ದಿನದ ಸುದ್ದಿ
‘ಪ್ರಧಾನಿ ಮೋದಿ ಹೇಳಿದ ಸುಳ್ಳುಗಳ’ ಪಟ್ಟಿ ನೀಡಿದ ಸಿಎಂ ಸಿದ್ದರಾಮಯ್ಯ ; ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್
ಸುದ್ದಿದಿನ ಡೆಸ್ಕ್ : ಚುನಾವಣಾ ಪ್ರಚಾರ ಮುಗಿಸಿ ವಿಶ್ರಾಂತಿ ಪಡೆಯುತ್ತಿದ್ದಾಗ ನಮ್ಮ ಪ್ರಧಾನಮಂತ್ರಿ ಮೋದಿ ಅವರು ಲೋಕಸಭಾ ಚುನಾವಣಾ ಪ್ರಚಾರ ಕಾಲದಲ್ಲಿ ಹೇಳುತ್ತಿರುವ ಸುಳ್ಳುಗಳ ನೆನಪಾಯಿತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.
ಸುಮ್ಮನೆ ಲೆಕ್ಕ ಹಾಕತೊಡಗಿದೆ. ಸದ್ಯಕ್ಕೆ ಇಷ್ಟು ನೆನಪಾಯಿತು. ಹೆಚ್ಚುವರಿಯಾಗಿ ನಿಮಗೆ ನೆನಪಾದರೆ ಇದಕ್ಕೆ ಸೇರಿಸಿಕೊಳ್ಳಿ. ಈ ಸುಳ್ಳುಗಳ ಸರಮಾಲೆ ಇಲ್ಲಿಗೆ ನಿಲ್ಲಲಾರದು, ಮುಂದುವರಿಯಲಿದೆ.
ಸ್ವತಂತ್ರ ಭಾರತದ ಇತಿಹಾಸದಲ್ಲಿ ಯಾವ ಪ್ರಧಾನಮಂತ್ರಿಯೂ ಇಷ್ಟೊಂದು ನಿರ್ಲಜ್ಜವಾಗಿ ಈ ರೀತಿ ಹಸಿಹಸಿ ಸುಳ್ಳುಗಳನ್ನು ಹೇಳಿರಲಾರರು. ಯಾರೂ ಕೂಡಾ ಪ್ರಧಾನಮಂತ್ರಿ ಕುರ್ಚಿಯ ಘನತೆಯನ್ನು ಈ ರೀತಿ ಮಣ್ಣು ಪಾಲು ಮಾಡಿರಲಾರರು.
ಮತದಾನದ ದಿನ ದೇಶದ ಜನರಿಗೆ ಸತ್ಯ-ಸುಳ್ಳುಗಳನ್ನು ಅರಿತುಕೊಳ್ಳುವ ಸದ್ಬುದ್ದಿಯನ್ನು ದೇವರು ಕರುಣಿಸಲಿ ಎಂದು ಬೇಡಿಕೊಳ್ಳುವೆ ಎಂದಿದ್ದಾರೆ.
ನರೇಂದ್ರ ಮೋದಿಯವರು ಹೇಳಿದ ಸುಳ್ಳುಗಳು…
- ಎಸ್‌ಸಿ/ಎಸ್‌ಟಿ, ಒಬಿಸಿ ಮೀಸಲಾತಿ ಕಿತ್ತುಕೊಂಡು ಮುಸ್ಲಿಮರಿಗೆ ನೀಡುವುದಾಗಿ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಹೇಳಿದೆ.
- ಸಂಪತ್ತಿನ ಸಮಾನ ಹಂಚಿಕೆಯ ನೆಪದಲ್ಲಿ ಕಾಂಗ್ರೆಸ್ ಪಕ್ಷ ಹಿಂದೂಗಳ ಆಸ್ತಿಯನ್ನು ಕಬಳಿಸಿ ಮುಸ್ಲಿಮರಿಗೆ ನೀಡಲಿದೆ.
- ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಂಗಳಸೂತ್ರ ಸೇರಿದಂತೆ ಜನರ ಚಿನ್ನ, ಆಸ್ತಿಯನ್ನು ಕಿತ್ತುಕೊಂಡು ಹೆಚ್ಚು ಮಕ್ಕಳು ಇರುವವರಿಗೆ, ನುಸುಳುಕೋರರಿಗೆ (ಮುಸ್ಲಿಮರಿಗೆ) ನೀಡಲಿದೆ.
- ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಅಯೋಧ್ಯೆಯ ರಾಮಮಂದಿರದ ಬಗ್ಗೆ ಸುಪ್ರಿಂ ಕೋರ್ಟ್ ನೀಡಿದ ತೀರ್ಪನ್ನು ಬದಲಾಯಿಸುತ್ತದೆ.
- ದೇಶದ ಸಂಪತ್ತಿನ ಮೊದಲ ಹಕ್ಕು ಮುಸ್ಲಿಮರಿಗೆ ಎಂದು ಪ್ರಧಾನಿ ಮನಮೋಹನ್ ಸಿಂಗ್ ಹೇಳಿದ್ದರು.
- ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ದೇಶದ ಜನರ ಪಿತ್ರಾರ್ಜಿತ ಆಸ್ತಿಗೆ ಶೇ.55ರಷ್ಟು ತೆರಿಗೆ ಹೇರಲಿದೆ.
- ಛತ್ರಪತಿ ಶಿವಾಜಿ ಮಹಾರಾಜ, ಕಿತ್ತೂರು ರಾಣಿ ಚೆನ್ನಮ್ಮ, ಮೈಸೂರಿನ ದೊರೆಗಳನ್ನು ಕಾಂಗ್ರೆಸ್‌ನವರು ನಿಂದಿಸುತ್ತಾರೆ.
- ಲೋಕಸಭಾ ಚುನಾವಣೆಯನ್ನು ವಿದೇಶಿ ಶಕ್ತಿಗಳು ನಿಯಂತ್ರಿಸುತ್ತಿದೆ.
- ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಉಗ್ರರಿಗೆ ಪ್ರಧಾನಮಂತ್ರಿಯವರ ನಿವಾಸದಲ್ಲಿ ಸ್ವಾಗತ ಕೋರಲಾಗಿತ್ತು.
- 2008ರಲ್ಲಿ ಮುಂಬೈ ಪ್ರವೇಶಿಸಿದ ಹತ್ತು ಉಗ್ರರ ಜೊತೆಗೆ ಕಾಂಗ್ರೆಸ್ ಸಂಪರ್ಕ ಹೊಂದಿತ್ತು
- ರಾಜ, ಮಹಾರಾಜರನ್ನು ಟೀಕಿಸುವ ಕಾಂಗ್ರೆಸ್ ನವಾಬರನ್ನು ಟೀಕಿಸುವುದಿಲ್ಲ.
- ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನಿಮ್ಮೆಲ್ಲರ ಮನೆ ಮನೆಗೂ ದಾಳಿ ನಡೆಸಿ ನೀವು ಕೂಡಿಟ್ಟ ಸಂಪತ್ತನ್ನು ವಶಪಡಿಸಿ, ಅದನ್ನು ತನ್ನ ವೋಟ್ ಬ್ಯಾಂಕ್‌ಗೆ (ಮುಸ್ಲಿಮರಿಗೆ) ಮರು ಹಂಚಿಕೆ ಮಾಡುತ್ತದೆ.
- ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಅಯೋಧ್ಯೆಯ ರಾಮಮಂದಿರಕ್ಕೆ ಬಾಬ್ರಿ ಬೀಗ ಹಾಕುತ್ತದೆ.
- ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಭಾರತದ ಕ್ರಿಕೆಟ್ ತಂಡದಲ್ಲಿ ಬರೀ ಮುಸ್ಲಿಮರೇ ಇರುತ್ತಾರೆ.
- ಕಳೆದ ಐದು ವರ್ಷಗಳಿಂದ ಅದಾನಿ-ಅಂಬಾನಿಗಳನ್ನು ಪ್ರಶ್ನೆ ಮಾಡುತ್ತಿದ್ದ ರಾಹುಲ್ ಗಾಂಧಿ ಏಕಾಏಕಿ ಪ್ರಶ್ನೆ ಮಾಡುವುದನ್ನು ನಿಲ್ಲಿಸಿದ್ದೇಕೆ? ಹಣ ತುಂಬಿದ ಟೆಂಪೋಗಳು ಕಾಂಗ್ರೆಸ್ ಮನೆಗೆ ತಲುಪಿದೆ.
ಸುಳ್ಳುಗಳು ಮುಂದುವರಿಯಲಿದೆ… ಎಂದು ಮತ್ತೆ ವ್ಯಂಗ್ಯವಾಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | 18 ನೇ ವಾರ್ಡ್ ನಲ್ಲಿ ಕೈ ಅಭ್ಯರ್ಥಿ ಸಮರ್ಥ ಶಾಮನೂರು ಪ್ರಚಾರ
ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಸಮರ್ಥ್ ಶಾಮನೂರು ಅವರು ಮಂಗಳವಾರ 18 ನೇ ವಾರ್ಡ್ ವ್ಯಾಪ್ತಿಯಲ್ಲಿ ಅಬ್ಬರ ಪ್ರಚಾರ ನಡೆಸಿದರು.
ನಗರದ ಬಾರ್ ಲೈನ್ ದರ್ಗಕ್ಕೆ ತೆರಳಿ ಚಾದರ ಅರ್ಪಿಸಿದ ಸಮರ್ಥ ಶಾಮನೂರು ಅವರಿಗೆ ಮುಸ್ಲಿಂ ಸಮಾಜದ ಬಾಂಧವರು ಆತ್ಮೀಯವಾಗಿ ಸನ್ಮಾನಿಸಿದರು. ಬಳಿಕ ಅಲ್ಲಿಂದ ಪ್ರಚಾರವನ್ನು ಆರಂಭಿಸಿದ ಅವರು ಎಂ.ಬಿ ಕೇರಿ, ಮಟನ್ ಮಾರ್ಕೇಟ್, ಗಡಿಯಾರ ಕಂಬ, ಸ್ವಾಗೇರ್ ಪೇಟೆ, ಹೊಂಡದ ರಸ್ತೆ, ಕಾಯಿಪೇಟೆಯ ಮನೆ ಮನೆಗೆ ತೆರಳಿ ಮತಯಾಚಿಸಿದರು.
ಕಾಂಗ್ರೆಸ್ ಪಕ್ಷದ ಮುಖಂಡರಾದ ನರಸಿಂಹಪ್ಪ, ರವಿಕುಮಾರ್, ಕಾಶಿನಾಥ್ ಅವರ ಮನೆಗೆ ಅಭ್ಯರ್ಥಿ ಸಮರ್ಥ ಶಾಮನುರು ಅವರು ಭೇಟಿ ನೀಡಿದಾಕ್ಷಣ ಕುಟುಂಬಸ್ಥರು ದಿವಂಗತರಾದ ಡಾ.ಶಾಮನೂರು ಶಿವಶಂಕರಪ್ಪ ಅವರನ್ನು ನೆನೆದು ಭಾವುಕರಾದರು. ಶಾಮನೂರು ಸಮರ್ಥ ಅವರಿಗೆ ದಕ್ಷಿಣ ಕ್ಷೇತ್ರದಲ್ಲಿ ಪ್ರಚಂಡ ಬಹುಮತವನ್ನು ನೀಡಿ ಗೆಲ್ಲಿಸುತ್ತೇವೆ ಎಂದು ಮತದಾರರು ಅಭಿಪ್ರಾಯ ವ್ಯಕ್ತಪಡಿಸಿದರು.
ಸ್ಥಳೀಯ ಮುಖಂಡರಾದ ಚಂದ್ರ ಶೇಖರ್, ಸೋಗಿ ಶಾಂತಕುಮಾರ್, ಪ್ರವೀಣ್ ರಾವ್, ಬಕ್ಕೇಶ್, ಪರಮೇಶ್, ಜಯರಾಜ್, ಹನುಮಂತ್, ರಾಘವೇಂದ್ರ, ಭೀಮಣ್ಣ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಕರ್ನಾಟಕ ಜಾಹೀರಾತು ನೀತಿಗೆ ಸಂಪಾದಕರ ವಿರೋಧ ; ಸಿಎಂಗೆ ಮನವಿ
ನೀತಿಯನ್ನು ಪರಿಶೀಲಿಸುವ ಭರವಸೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಸುದ್ದಿದಿನ,ದಾವಣಗೆರೆ: ಕರ್ನಾಟಕ ಜಾಹೀರಾತು ನೀತಿ-2026 ರಲ್ಲಿ ಪತ್ರಿಕೆಗಳಿಗೆ ಮಾರಕವಾದ ನಿಯಮಗಳನ್ನು ಕೈಬಿಡುವಂತೆ ಕೋರಿ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ದಾವಣಗೆರೆ ಜಿಲ್ಲಾ ವರದಿಗಾರರ ಕೂಟದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸೋಮವಾರ ಮಧ್ಯಾಹ್ನ ನಗರದ ಎಂ.ಬಿ.ಎ ಗ್ರೌಂಡ್ ಹೆಲಿಪ್ಯಾಡ್ ನಲ್ಲಿ ಮನವಿ ಸಲ್ಲಿಸಲಾಯಿತು.
ರಾಜ್ಯದಲ್ಲಿ ಜಾರಿಗೆ ತರಲು ಹೊರಟಿರುವ ಕರ್ನಾಟಕ ಜಾಹೀರಾತು ನೀತಿ-2026 ಜಿಲ್ಲಾ ಮಟ್ಟದ ಮತ್ತು ಪ್ರಾದೇಶಿಕ ಮಟ್ಟದ ಪತ್ರಿಕೆಗಳಿಗೆ ಮಾರಕವಾಗಿದ್ದು,ಇದರಿಂದ ಶತಶತಮಾನಗಳಿಂದ ಸಮಾಜದ ಮತ್ತು ಸರ್ಕಾರದ ಕೊಂಡಿಯಾಗಿ ಸೇವೆ ಮಾಡುತ್ತಿರುವ ಪತ್ರಿಕೆಗಳು ಮುಚ್ಚುತ್ತವೆ. ಯಾವುದೇ ಕಾರಣಕ್ಕೂ ಪತ್ರಿಕೆಗಳಿಗೆ ಮಾರಕವಾಗುವ ನಿಯಮಗಳನ್ನು ಅಳವಡಿಸದೇ ಪತ್ರಿಕೆಗಳ ಏಳಿಗೆಗೆ ಪೂರಕವಾದ ಅಂಶಗಳನ್ನು ಸೇರಿಸಿ ಕರ್ನಾಟಕ ಜಾಹೀರಾತು ನೀತಿಯನ್ನು ಜಾರಿಗೆ ತರಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ , ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರಿಗೆ ಮನವರಿಕೆ ಮಾಡಿಕೊಡಲಾಯಿತು.
ಸಂಘಗಳ ಮನವಿ ಸ್ವೀಕರಿಸಿದ ಮುಖ್ಯಮಂತ್ರಿಗಳು ಜಾಹೀರಾತು ನೀತಿ ಪರಿಶೀಲಿಸುವ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘದ ರಾಜ್ಯಾಧ್ಯಕ್ಷರಾದ ಎ.ಸಿ.ತಿಪ್ಪೇಸ್ವಾಮಿ, ಜಿಲ್ಲಾ ಘಟಕದ ಅಧ್ಯಕ್ಷರಾದ ಸುರೇಶ್ ಆರ್ ಕುಣೆಬೆಳಕೆರೆ, ಖಜಾಂಜಿ ಶಿವಮೂರ್ತಿ ಟಿ.ಜಿ , ರಾಜ್ಯ ಸಂಘದ ನಾಮನಿರ್ದೇಶನ ಸದಸ್ಯ ಕೆ.ಜೈಮುನಿ ಮತ್ತು
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಅಧ್ಯಕರಾದ ಇ.ಎಂ.ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಬದ್ರಿನಾಥ್, ಖಜಾಂಚಿ ಜೆ.ಎಸ್.ವೀರೇಶ್ ಹಾಗೂ ದಾವಣಗೆರೆ ಜಿಲ್ಲಾ ವರದಿಗಾರರ ಕೂಟದ ಅಧ್ಯಕ್ಷರಾದ ನಾಗರಾಜ ಬಡದಾಳ್ , ಹಿರಿಯ ಪತ್ರಕರ್ತರಾದ ಕೆ.ಏಕಾಂತಮ್ಮ, ಬಿ.ಎನ್.ಮಲ್ಲೇಶ್, ಮಲ್ಲಿಕಾರ್ಜುನ ಕಬ್ಬೂರು, ಆರ್.ಎಸ್.ತಿಪ್ಪೇಸ್ವಾಮಿ, ಕೊಟ್ರೇಶ್ ಅಣಬೂರುಮಠ, ನಿಂಗಪ್ಪ, ಗೋವಿಂದ ರಾಜು, ಫಕೃದ್ದೀನ್, ಆರ್.ರವಿ,ಬಿ.ವಾಸುದೇವ, ರಾಘವೇಂದ್ರ ರಾವ್, ವೇದಮೂರ್ತಿ,ನಿಂಗಪ್ಪ, ಪರಶುರಾಮ, ನಂದಕುಮಾರ್ ಮುಂತಾದವರು ಇದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಹರಿಹರ ನಗರಸಭೆಯು 04 ಸಂಖ್ಯಾತಿರಿಕ್ತ ಪೌರಕಾರ್ಮಿಕರ ಹುದ್ದೆಗಳನ್ನು ವಿಶೇಷ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಪ್ರಸ್ತುತ ಹರಿಹರ ನಗರಸಭೆಯಲ್ಲಿ ಕೆಲಸ ನಿರ್ವಹಿಸುತ್ತಿರುವವರು ಹಾಗೂ ಈ ನಿಯಮ ಜಾರಿಗೆ ಬಂದ ದಿನಾಂಕದಲ್ಲಿಯೂ ಸದರಿ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಮಾರ್ಚ್ 11 ರಿಂದ ಅರ್ಜಿಗಳನ್ನು ಪಡೆದುಕೊಳ್ಳಬಹುದು.
ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಏಪ್ರಿಲ್ 10 ಕಡೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಅರ್ಜಿಗಳನ್ನು ಹರಿಹರ ನಗರಸಭೆ ಕಚೇರಿಯಿಂದ ಮಾತ್ರ ಪಡೆದುಕೊಳ್ಳಬೇಕು. ಹುದ್ದೆಗಳ ವರ್ಗೀಕರಣ, ಷರತ್ತುಗಳು, ವಯೋಮಿತಿ ಮತ್ತು ಅಗತ್ಯ ಅರ್ಹತೆಗಳ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಕಚೇರಿ ಸಮಯದಲ್ಲಿ ಹರಿಹರ ನಗರಸಭೆ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ದಾವಣಗೆರೆಯ ಜಿಲ್ಲಾಧಿಕಾರಿಗಳು ಹಾಗೂ ಆಯ್ಕೆ ಮತ್ತು ನೇರ ನೇಮಕಾತಿ ಪ್ರಾಧಿಕಾರದ ಅಧ್ಯಕ್ಷರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243


