ದಿನದ ಸುದ್ದಿ
’ನಮ್ಮ ಕ್ಲಿನಿಕ್’ ಮೂಲಕ 30 ವರ್ಷ ಮೇಲ್ಪಟ್ಟವರಿಗೆ ಮಧುಮೇಹ ತಪಾಸಣೆ : ಸಚಿವ ಡಾ.ಕೆ. ಸುಧಾಕರ್
ಸುದ್ದಿದಿನ, ಬೆಂಗಳೂರು : ಮಧುಮೇಹ ಸೇರಿದಂತೆ ಅಸಾಂಕ್ರಾಮಿಕ ರೋಗಗಳನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ’ನಮ್ಮ ಕ್ಲಿನಿಕ್’ ಮೂಲಕ 30 ವರ್ಷ ವಯಸ್ಸು ಮೇಲ್ಪಟ್ಟ ಎಲ್ಲರಿಗೂ ಮಧುಮೇಹದ ತಪಾಸಣೆ ಮಾಡಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.
ಬೆಂಗಳೂರಿನಲ್ಲಿಂದು ಆರೋಗ್ಯ ಸಿಟಿ ಸಮ್ಮಿಟ್‌ನಲ್ಲಿ ಮಾತನಾಡಿದ ಸಚಿವರು, ಅಸಾಂಕ್ರಾಮಿಕ ರೋಗಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಇದರ ನಿರ್ವಹಣೆಗೆ ನಗರಗಳಲ್ಲಿ ಒಟ್ಟು 438 ’ನಮ್ಮ ಕ್ಲಿನಿಕ್’ ಗಳನ್ನು ಆರಂಭಿಸಲು ತೀರ್ಮಾನಿಸಲಾಗಿದೆ. ಕೊಳೆಗೇರಿ, ಬಡ ಜನರು ವಾಸಿಸುವ ಪ್ರದೇಶಗಳಲ್ಲಿ ಇಂತಹ ಕ್ಲಿನಿಕ್ ಆರಂಭಿಸಿ ಜನರಿಗೆ ಆರೋಗ್ಯ ತಪಾಸಣೆ ಮಾಡಲಾಗುತ್ತದೆ ಎಂದರು.
ರಾಜ್ಯದಲ್ಲಿ 6 ಸಾವಿರದ 500ಕ್ಕೂ ಅಧಿಕ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳನ್ನು ಈಗಾಗಲೇ ಆರಂಭಿಸಲಾಗಿದೆ. ಇವುಗಳ ಮೂಲಕವೂ ಮಧುಮೇಹ ತಪಾಸಣೆ ಮಾಡಲಾಗುವುದು. 200ಕ್ಕೂ ಅಧಿಕ ನಮ್ಮ ಕ್ಲಿನಿಕ್ ಸಿದ್ಧವಾಗಿದ್ದು, ತಿಂಗಳಾಂತ್ಯದಲ್ಲಿ ಬೇರೆ ಪ್ರದೇಶಗಳಲ್ಲಿ 100 ಹಾಗೂ ಒಂದು ವಾರದ ಬಳಿಕ ಬೆಂಗಳೂರು ನಗರದಲ್ಲಿ ಕ್ಲಿನಿಕ್ ಉದ್ಘಾಟಿಸಲಾಗುವುದು ಎಂದರು.
ಕಳೆದ ಮೂರು ವರ್ಷಗಳಲ್ಲಿ ರಾಜ್ಯದ ಶೇಕಡ 50ರಷ್ಟು ಜನರನ್ನು ಅಸಾಂಕ್ರಾಮಿಕ ರೋಗಗಳ ತಪಾಸಣೆಗೆ ಒಳಪಡಿಸಲಾಗಿದ್ದು, ಮುಂದಿನ 18 ತಿಂಗಳಲ್ಲಿ ರಾಜ್ಯದ ಶೇಡಡ 100ರಷ್ಟು ಜನರಿಗೆ ಆರೋಗ್ಯ ತಪಾಸಣೆ ಮಾಡಿಸಬೇಕು ಎಂಬುದು ಸರ್ಕಾರದ ಗುರಿಯಾಗಿದೆ ಎಂದು ಸಚಿವರು ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243