Connect with us

ನೆಲದನಿ

ಕೇರಳವೆಂಬ ಹುಚ್ಚಾಸ್ಪತ್ರೆಯಲ್ಲಿ ವಿವೇಕ ಬಿತ್ತಿದ ಗುರು

Published

on

  • ದಿನೇಶ್ ಅಮಿನ್ ಮಟ್ಟು

ರ್ನಾಟಕದ ವಿಧಾನಸಭೆಗೆ ಇತ್ತೀಚೆಗೆ ನಡೆದ ಚುನಾವಣೆಯ ಫಲಿತಾಂಶ ಕೋಮುವಾದಿಗಳ ವಿರುದ್ದದ ಜಾತ್ಯತೀತರ ಗೆಲುವು ಎಂದು ವ್ಯಾಖ್ಯಾನಿಸುವವರಿದ್ದಾರೆ. ಇಲ್ಲ ಇದು ಒಂದು ಪಕ್ಷ ಸೋತು ಇನ್ನೊಂದು ಪಕ್ಷ ಗೆದ್ದ ಸಾಮಾನ್ಯ ರಾಜಕೀಯ ಬದಲಾವಣೆ ಎಂದು ಸರಳೀಕರಿಸುವವರೂ ಇದ್ದಾರೆ. ವಾಸ್ತವ ಎಲ್ಲೋ ಈ ಎರಡು ಅಭಿಪ್ರಾಯಗಳ ಮಧ್ಯೆ ಇದ್ದ ಹಾಗಿದೆ. ಇಂತಹ ಭಿನ್ನ ಅಭಿಪ್ರಾಯಗಳೇನಿದ್ದರೂ ಈ ಚುನಾವಣೆಯಲ್ಲಿ ನೆಲಕಚ್ಚಿದ ಕೋಮುವಾದಿ ರಾಜಕಾರಣ ಮತ್ತೆ ಜೀವಪಡೆಯದಂತೆ ನೋಡಿಕೊಳ್ಳುವ ಹೊಣೆ ರಾಜ್ಯದ ಎಲ್ಲ ಪ್ರಜ್ಞಾವಂತರ ಮೇಲಿದೆ.

‘ಕೋಮುವಾದ’ ದ ರಾಜಕಾರಣವನ್ನು ಎದುರಿಸುವ ಸರಿಯಾದ ಮತ್ತು ಯಶಸ್ವಿ ಅಸ್ತ್ರ ಎಂದರೆ ‘’ಸಾಮಾಜಿಕ ನ್ಯಾಯ’’ದ ರಾಜಕಾರಣ. ಈ ಮೂಲಕ ಕೋಮುವಾದ ರಾಜಕಾರಣ ಮಾಡುತ್ತಾ ಬಂದವರೂ ಅನಿವಾರ್ಯವಾಗಿ ‘ಸಾಮಾಜಿಕ ನ್ಯಾಯ’ದ ರಾಜಕೀಯದ ಆಟದ ನಿಯಮಗಳನ್ನೇ ಪಾಲಿಸುವಂತೆ ಮಾಡಬೇಕಾದ ಅನಿವಾರ್ಯತೆಯನ್ನು ಸೃಷ್ಟಿಸಬೇಕಾಗಿದೆ.
‘ಸಾಮಾಜಿಕ ನ್ಯಾಯ’ದ ರಾಜಕಾರಣಕ್ಕೆ ದಾರಿತೋರಿಸಬಲ್ಲ ಅನೇಕ ಯಶಸ್ವಿ ಚಿಂತನೆಗಳ ಮಾದರಿಗಳು ನಮ್ಮ ಮುಂದಿವೆ. ಇವರಲ್ಲಿ ಬುದ್ಧ, ಬಸವಣ್ಣ, ಅಂಬೇಡ್ಕರ್, ರಾಮಮನೋಹರ ಲೋಹಿಯಾ ಚಿಂತನೆಯ ಮಾದರಿಗಳ ಬಗ್ಗೆ ವಿಸ್ತೃತವಾದ ಚರ್ಚೆ ಕರ್ನಾಟಕದಲ್ಲಿ ನಡೆದಿವೆ. ರಾಜ್ಯದಲ್ಲಿ ಹೆಚ್ಚುಚರ್ಚೆಗೊಳಗಾಗದ ಇನ್ನೊಂದು ಮಾದರಿ ಕೇರಳದ ಸಮಾಜ ಸುಧಾರಕ ನಾರಾಯಣ ಗುರುಗಳ ಚಿಂತನೆಯದ್ದು. ನಾವಿಂದು ಕಾಣುತ್ತಿರುವ ಪುರೋಗಾಮಿ ಮತ್ತು ಪ್ರಗತಿಗಾಮಿ ಕೇರಳದ ರೂವಾರಿ ನಾರಾಯಣ ಗುರುಗಳು. ಅವರ ಪ್ರವೇಶಕ್ಕೆ ಮುನ್ನ ಹಿಂದೂ ಸಮಾಜದ ಸುಧಾರಣೆಯ ಪ್ರಯತ್ನದಲ್ಲಿದ್ದ ಸ್ವಾಮಿ ವಿವೇಕಾನಂದರೇ ಕೇರಳ ರಾಜ್ಯ ಒಂದು ಹುಚ್ಚಾಸ್ಪತ್ರೆ’ ಎಂದು ಕೈಚೆಲ್ಲಿ ಹೋಗಿದ್ದರು.

ಜಾತಿವ್ಯವಸ್ಥೆ ಆ ರೀತಿಯ ಭೀಕರ ಮನೋರೋಗಿಗಳನ್ನು ಅಲ್ಲಿ ಸೃಷ್ಟಿಸಿತ್ತು. ದೇವಸ್ಥಾನ ಪ್ರವೇಶ ದೂರವೇ ಉಳಿಯಿತು. ಅದರ ಎದುರಿನ ರಸ್ತೆಯಲ್ಲಿ ಕೂಡಾ ಅಸ್ಪøಶ್ಯರು ನಡೆದಾಡುವಂತಿರಲಿಲ್ಲ. ಮಹಾತ್ಮ ಗಾಂಧೀಜಿ ಮತ್ತು ನಾರಾಯಣ ಗುರುಗಳ ನೇತೃತ್ವದಲ್ಲಿ ನಡೆದ ಐತಿಹಾಸಿಕ ವೈಕಂ ಸತ್ಯಾಗ್ರಹ ನಡೆದದ್ದು ದೇವಸ್ಥಾನ ಪ್ರವೇಶಕ್ಕಾಗಿ ಅಲ್ಲ, ಅದರ ಮುಂಭಾಗದ ರಸ್ತೆಯಲ್ಲಿ ನಡೆದಾಡುವ ಸ್ವಾತಂತ್ರ್ಯಕ್ಕಾಗಿ ಎಂಬುದು ಗಮನಾರ್ಹ. ಒಂದೆಡೆ ಮೂಡನಂಬಿಕೆ,ಕಂದಾಚಾರಗಳು, ಇನ್ನೊಂದೆಡೆ ಮೇಲ್ವರ್ಗದವರ ದೌರ್ಜನ್ಯದಿಂದ ಅಲ್ಲಿ ಬಹುಸಂಖ್ಯೆಯಲ್ಲಿರುವ ತಳಸಮುದಾಯ ನಲುಗಿಹೋಗಿತ್ತು.

ಆದರೆ, ಇದೇ ಕೇರಳ ಇಂದು ದೇಶದಲ್ಲಿಯೇ ಅತ್ಯಂತ ಹೆಚ್ಚು ಸಾಕ್ಷರತೆ ಇರುವ ಮತ್ತು ಪ್ರಗತಿಪರ ಚಿಂತಕರಿರುವ ರಾಜ್ಯ. ಪ್ರಜಾಸತಾತ್ಮಕವಾಗಿ ಆಯ್ಕೆಯಾದ ದೇಶದ ಮೊದಲ ಹಾಗೂ ಜಗತ್ತಿನ ಎರಡನೇ ಕಮ್ಯೂನಿಸ್ಟ್ ಸರ್ಕಾರ ಅಸ್ತಿತ್ವಕ್ಕೆ ಬಂದದ್ದು ಕೇರಳದಲ್ಲಿ. ದೇಶ ವಿಭಜನೆ ಕಾಲದಲ್ಲಿ ಉತ್ತರ ಭಾರತ ಕೋಮುದಳ್ಳುರಿಯಲ್ಲಿ ಹತ್ತಿ ಉರಿಯುತ್ತಿದ್ದಾಗ ಶೇ.18ಕ್ಕೂ ಹೆಚ್ಚು ಮುಸ್ಲಿಂ ಜನಸಂಖ್ಯೆ ಇರುವ ಕೇರಳ ಶಾಂತವಾಗಿತ್ತು. ಅಡ್ವಾನಿಯವರ ರಥಯಾತ್ರೆಯ ನಂತರ ದೇಶಾದ್ಯಂತ ಕೋಮುಗಲಭೆ ಭುಗಿಲೆದ್ದಾಗಲೂ ಅಲ್ಲಿ ಯಾವ ಅಹಿತಕರ ಘಟನೆಗಳು ನಡೆಯಲಿಲ್ಲ. ದಕ್ಷಿಣದ ರಾಜ್ಯಗಳಲ್ಲಿ ಪ್ರಯಾಸಪಟ್ಟು, ಪ್ರವೇಶ ಪಡೆದ ಬಿಜೆಪಿಯನ್ನು ಈಗಲೂ ಹೊಸಲಿನಾಚೆ ನಿಲ್ಲಿಸಿರುವ ರಾಜ್ಯ ಕೇರಳ.

ಕೇವಲ ನೂರು ವರ್ಷಗಳ ಅವಧಿಯಲ್ಲಿ ಕೇರಳದಲ್ಲಿ ನಡೆದ ಈ ಸಾಮಾಜಿಕ ಮತ್ತು ರಾಜಕೀಯ ಬದಲಾವಣೆಗೆ ಕಾರಣಗಳನ್ನು ಶೋಧಿಸುತ್ತಾ ಹೋದರೆ ನಮ್ಮೆದುರು ನಿಧಾನವಾಗಿ ನಾರಾಯಣ ಗುರು ಎಂಬ ಸಂತ ನಡೆಸಿದ್ದ ಧಾರ್ಮಿಕ ಚಳುವಳಿ ತೆರೆದುಕೊಳ್ಳುತ್ತದೆ. ನಾರಾಯಣ ಗುರುಗಳು ಹುಟ್ಟಿ ಸರಿಯಾಗಿ ನೂರು ವರ್ಷಗಳ ಅವಧಿಯಲ್ಲಿ ಕೇರಳದಲ್ಲಿ ಮೊದಲ ಬಾರಿಗೆ ಕಮ್ಯುನಿಸ್ಟ್ ಸರ್ಕಾರ ಅಸ್ತಿತ್ವಕ್ಕೆ ಬಂತೆಂಬುದು ಉಲ್ಲೇಖನೀಯ. ನಾರಾಯಣ ಗುರುಗಳು ಪ್ರಾರಂಭಿಸಿದ ಧಾರ್ಮಿಕ ಸುಧಾರಣಾ ಚಳವಳಿಯನ್ನು ಈ ಹಿನ್ನೆಲೆಯಲ್ಲಿ ನೋಡಬೇಕಾಗುತ್ತದೆ. ಅವರ ಕಾರ್ಯತಂತ್ರ ಉಳಿದ ಸಮಾಜ ಸುಧಾರಕರಿಗಿಂತ ಯಾಕೆ ಭಿನ್ನವಾಗಿತ್ತು ಎಂಬ ಪ್ರಶ್ನೆಗಳಿಗೆ ಈ ಹಿನ್ನೋಟದಲ್ಲಿ ಉತ್ತರ ಇದೆ.

ಒಂದು ಚಳವಳಿಯ ಸೋಲು-ಗೆಲುವು, ಅದರ ಸಿದ್ದಾಂತ, ಸಂಘಟನೆ ಮತ್ತು ಹೋರಾಟದ ನೆಲಗಳನ್ನು ಅವಲಂಭಿಸಿರುತ್ತೇ. ನಾರಾಯಣ ಗುರು ಚಳವಳಿಯ ಎಲ್ಲಾ ಮಗ್ಗಲುಗಳನ್ನು ಈ ರೀತಿ ಸಮಾಜ ವಿಜ್ಞಾನದ ಹಿನ್ನೆಲೆಯಲ್ಲಿ ಅಧ್ಯಯನ ನಡೆಸುವ ಪ್ರಯತ್ನ ಕನ್ನಡದಲ್ಲಿ ನಡೆದಿಲ್ಲ. ಈ ರೀತಿಯ ಅಧ್ಯಯನದ ಕೊರತೆಯಿಂದಾಗಿಯೇ ನಾರಾಯಣ ಗುರು ಒಬ್ಬರದ್ದೇ ವೈಭವೀಕರಣ ನಡೆದು ಆ ಚಳವಳಿಯಲ್ಲಿ ಪ್ರಮುಖ ಪಾತ್ರ ವಹಿಸಿದ ನಾರಾಯಣ ಗುರುಗಳ, ಅನೇಕ ಅನುಯಾಯಿಗಳ ಪರಿಚಯ ಹೊರಜಗತ್ತಿಗೆ ಆಗಿಲ್ಲ.

ನಾರಾಯಣ ಗುರು ಚಳವಳಿ, ಪ್ರಮುಖವಾಗಿ ಐದು ಹಂತಗಳಲ್ಲಿ ನಡೆಯಿತು.ಮೊದಲನೆಯದು ಡಾ.ಪಲ್ಪು ನೇತೃತ್ವದ ಸಾಮಾಜಿಕ ಜಾಗೃತಿ, ಎರಡನೇಯದ್ದು ನಾರಾಯಣ ಗುರು ನೇತೃತ್ವದ ಸಾಮಾಜಿಕ ಸುಧಾರಣೆ, ಮೂರನೆಯದ್ದು ಕುಮಾರನ್ ಆಶಾನ್ ನೇತೃತ್ವದ ಸರ್ಕಾರಿ ಶಾಲೆಗಳಲ್ಲಿ ಪ್ರವೇಶಕ್ಕಾಗಿ ನಡೆದ ಚಳವಳಿ, ನಾಲ್ಕನೇಯದ್ದು ಟಿ.ಕೆ ಮಾಧವನ್ ನೇತೃತ್ವದಲ್ಲಿ ದೇವಾಲಯಗಳ ಪ್ರವೇಶ ಮತ್ತು ಅಸ್ಪøಶ್ಯತೆಯ ವಿರುದ್ಧ ನಡೆದ ಚಳವಳಿ ಹಾಗೂ ಕೊನೆಯದ್ದು, ಸಿ.ಕೇಶವನ್ ನೇತೃತ್ವದಲ್ಲಿ ರಾಜಕೀಯ ಪ್ರಾತಿನಿಧ್ಯಕ್ಕಾಗಿ ನಡೆದ ಹೋರಾಟ. ಈ ಎಲ್ಲಾ ಹೋರಾಟಗಳು ನಾರಾಯಣ ಗುರುಗಳ ಸಿದ್ಧಾಂತ ನೆಲೆಗಟ್ಟಿನ ಮೇಲೆಯೇ ನಡೆದಿವೆ.

ಧಾರ್ಮಿಕ ಸುಧಾರಣೆಯ ಮೂಲಕ ಪ್ರಾರಂಭಗೊಂಡ ನಾರಾಯಣ ಗುರು ಚಳವಳಿ ಕಾಲ ಸರಿದಂತೆ ಶೈಕ್ಷಣಿಕ, ಆರ್ಥಿಕ ಮತ್ತು ರಾಜಕೀಯ ಆಯಾಮಗಳನ್ನು ಪಡೆದುಕೊಂಡು ಬೆಳೆಯುತ್ತಾ ಹೋಗಿದ್ದು ಆಕಸ್ಮಿಕವಲ್ಲ, ಅದು ಗುರುಗಳೇ ರೂಪಿಸಿದ ಕಾರ್ಯ ತಂತ್ರವೇನೋ ಎಂಬ ಅನುಮಾನ ಮೂಡುತ್ತದೆ.. ಸಮಾಜದ ಅಮೂಲಾಗ್ರ ಬದಲಾವಣೆ ಎಂದರೆ, ಪ್ರಮುಖವಾಗಿ ಆರ್ಥಿಕ ಮತ್ತು ಸಾಮಾಜಿಕ ಬದಲಾವಣೆ ಎಂಬುದನ್ನು ನಾರಾಯಣ ಗುರು ಅರಿತಿದ್ದರು. ಇಂತಹ ಬದಲಾವಣೆಗೆ ಸಮುದಾಯದ ಮನಸ್ಸನ್ನು ಸಿದ್ದಗೊಳಿಸುವ ಪ್ರಾಥಮಿಕ ಕಾರ್ಯವನ್ನು ಅವರು ದೇವಾಲಯಗಳ ಸ್ಥಾಪನೆ ಮೂಲಕ ಮಾಡಿದರು.
ಅಸ್ಪøಶ್ಯತೆಯ ವಿರುದ್ಧದ ಹೋರಾಟಗಳಲ್ಲಿ ದೇವಸ್ಥಾನ ಪ್ರವೇಶ ಚಳವಳಿಯದ್ದು ಪ್ರಮುಖ ಪಾತ್ರವಾದರೆ, ನಾರಾಯಣ ಗುರುಗಳು ಅದನ್ನೇ ಕೈಬಿಟ್ಟಿದ್ದರು. ಅವರು ಸವರ್ಣೀಯರ ಒಡೆತನದ ದೇವಾಲಯ ಪ್ರವೇಶಿಸಲಿಲ್ಲ. ಅದನ್ನು ಬಹಿಷ್ಕರಿಸಿದರು. ಮತ್ತು ಅವರ್ಣಿಯ ದೇವಾಲಯಗಳನ್ನು ಸ್ಥಾಪಿಸಿದರು. ಆದರೆ, ಅವರು ಮತ್ತೊಂದು ಧರ್ಮವನ್ನು ಕೂಡ ಸ್ಥಾಪಿಸಲು ಹೋಗಲಿಲ್ಲ.

ಮೊದಲು ದೇವಸ್ಥಾನ ಪ್ರವೇಶ ಚಳವಳಿ ನಡೆಸದೆ, ದೇವಸ್ಥಾನ ನಿರ್ಮಿಸುವ ಅವರ ಕಾರ್ಯತಂತ್ರ ಎರಡು ರೀತಿಯಲ್ಲಿ ಅವರಿಗೆ ನೆರವಾಯಿತು. ದೇವಸ್ಥಾನ ಪ್ರವೇಶ ಹೋರಾಟಕ್ಕೆ ಎದುರಾಗುವ ಪ್ರತಿಭಟನೆಯನ್ನು ಎದುರಿಸುವ ಸಂಘಟನಾ ಶಕ್ತಿ ಅಸ್ಪøಶ್ಯರಲ್ಲಿ ಆಗಿನ್ನೂ ಇರಲಿಲ್ಲ ಎಂದು ನಾರಾಯಣ ಗುರುಗಳಿಗೆ ತಿಳಿದಿತ್ತು. ನಾರಾಯಣ ಗುರು ಮೊದಲ ದೇವಸ್ಥಾನ ಸ್ಥಾಪಿಸಿದ ಮೂವತ್ತಾರು ವರ್ಷಗಳ ನಂತರ ದೇವಾಲಯಗಳ ಮುಂಭಾಗದ ರಸ್ತೆಗಳಲ್ಲಿ ನಡೆಯುವ ಹಕ್ಕಿಹಾಗಿ ನಡೆದ ವೈಕಂ ಸತ್ಯಾಗ್ರಹಕ್ಕೆ ಎದುರಾದ ಪ್ರತಿಭಟನೆಯನ್ನು ನೋಡಿದರೆ, ಇದು ಸ್ಪಷ್ಟವಾಗುತ್ತದೆ.

ದೇವಸ್ಥಾನದ ಸ್ಥಾಪನೆಯನ್ನು ಪ್ರಶ್ನಿಸಿದ ಪುರೋಹಿತರಿಗೆ ನಾನು ಸ್ಥಾಪಿಸಿದ್ದು ಈಳವರ ಶಿವ ಎಂಬ ಮಾರ್ಮಿಕ ಉತ್ತರ ಕೊಟ್ಟು ಗುರುಗಳು ಯುದ್ದಕ್ಕೆ ಬಂದ ಅವರನ್ನು ಶಸ್ತ್ರಪ್ರಯೊಗವಿಲ್ಲದೆಯೇ ನಿಶ್ಯಸ್ತ್ರಗೊಳಿಸಿದರು. ಅದೇ ರೀತಿ, ಸಹಸ್ರಾರು ವರ್ಷಗಳಿಂದ ತಮ್ಮಿಂದ ದೂರವೇ ಉಳಿದಿದ್ದ ದೇವಸ್ಥಾನಗಳಿಗೆ ಪ್ರವೇಶಿಸಲು ಅಡ್ಡಿಯಾಗುವ ಸಾಂಪ್ರದಾಯಿಕ ಮನಸ್ಸಿನ ಹಿಂಜರಿಕೆ ಹಾಗೂ ಭೀತಿಯಿಂದಲೂ ಕೆಳವರ್ಗದ ಜನರನ್ನು ಅವರು ಮುಕ್ತಗೊಳಿಸಿದರು. ದೇವಾಲಯಕ್ಕೆ ಹೋಗುವ ಹಕ್ಕು ನಿಮಗಿಲ್ಲವಾದರೆ, ದೇವಾಲಯವನ್ನೇ £ಮ್ಮಲ್ಲಿಗೆ ತರುತ್ತೇನೆ ಎಂದು ಅಸ್ಪøಶ್ಯರಿಗೆ ಪೂಜೆಯ ಹಕ್ಕನ್ನು £ೀಡುವ ಮೂಲಕ ಅವರಲ್ಲಿ ಸ್ವಾಭಿಮಾನ ಜಾಗೃತಿಗೆ ಕಾರಣರಾದರು.

ದೇವಸ್ಥಾನಗಳ ಸ್ಥಾಪನೆ ಅಂದಿನ ಪುರೋಹಿತಶಾಹಿಗೆ ಅಘಾತಕಾರಿಯಾದ ಹೊಡೆತ, ಭಕ್ತ ಸಮೂಹದಲ್ಲಿ ದೈಹಿಕವಾಗಿ ದೂರವೇ ಉಳಿದಿದ್ದ ಮೂರನೇ ಎರಡರಷ್ಟಿದ್ದ ಕೆಳವರ್ಗದ ಜನರು ಮಾನಸಿಕವಾಗಿ ಕೂಡ ದೂರವೇ ಉಳಿದರೆ, ದೇವಸ್ಥಾನಗಳ ಹುಂಡಿ ತುಂಬುವುದು ಹೇಗೆ? ಅದರ ಮೂಲಕ ಉದರ ತುಂಬುವುದು ಹೇಗೆ ? ಎಂಬ ಭೀತಿ ಅವರನ್ನಾವರಿಸಿತ್ತು. ನಾರಾಯಣ ಗುರುಗಳ ನಂತರ ಕೇರಳದಲ್ಲಿ ಸವರ್ಣಿಯ ದೇವಾಲಯಗಳ ಆದಾಯದಲ್ಲಿ ಗಣನೀಯ ಕುಸಿತ ಕಂಡುಬಂದಿರುವುದು ದಾಖಲೆಯಲ್ಲಿದೆ.
ನಾರಾಯಣ ಗುರುಗಳು ಎಂದೂ ಹಿಂದೂ ಧರ್ಮವನ್ನು ಪೆರಿಯಾರ್, ಅಂಬೇಡ್ಕರ್‍ರವರಂತೆ ಸಾರಾಸಗಟಾಗಿ ತಿರಸ್ಕರಿಸಲಿಲ್ಲ. ಅವರು ತಮ್ಮ ಜೀವನದುದ್ದಕ್ಕೂ ಧಾರ್ಮಿಕ ಪುನರುತ್ಥಾನದ ಬಗ್ಗೆ ಮಾತನಾಡುತ್ತಿದ್ದರು. ಇಲ್ಲಿ ದೇವನೂರು ಮಹಾದೇವ ಅವರ ಮಾತೊಂದು ನೆನಪಿಗೆ ಬರುತ್ತದೆ.

ಹಿಂದೂ ಧರ್ಮ ಎಂಬ ಮನೆಯೊಳಗೆ ಭಿನ್ನವಾದ ಜಾತಿ ತಾರತಮ್ಯದ ಕಂಬಗಳನ್ನು ಒಳಗೊಳಗೆ ಕುಯ್ಯುವಂತೆ ಗಾಂಧೀಜಿ ಕಾಣಿಸಿದರೆ, ಅಂಬೇಡ್ಕರ್ ಹೊರಗಿನಿಂದ ಆ ಅಸಮಾನತೆಯ ಮನೆಗೆ ಕಲ್ಲೆಸೆಯುವಂತೆ ಕಾಣುತ್ತಾರೆ ಎಂದು ಗಾಂಧೀ ಮತ್ತು ಅಂಬೇಡ್ಕರ್ ಅವರ ಸೈದ್ಧಾಂತಿಕ ಸಂಘರ್ಷವನ್ನು ಪ್ರಸ್ತಾಪಿಸುತ್ತಾ ದೇವನೂರು ಹೇಳುತ್ತಾರೆ.

ಗಾಂಧೀ ಆ ಕೆಲಸ ಮಾಡಿರುವ ಬಗ್ಗೆ ಭಿನ್ನಾಭಿಪ್ರಾಯಗಳಿರಬಹುದು. ಆದರೆ, ನಾರಾಯಣ ಗುರುಗಳ ಧಾರ್ಮಿಕ ಸುಧಾರಣಾವಾದಿ ಚಳವಳಿ ಮಾತ್ರ ಈ ಕಂಬ ಕುಯ್ಯುವ ಕೆಲಸವನ್ನು ಮಾಡಿದೆ. ಅವರದ್ದು ಸಂಘರ್ಷದ ಹಾದಿಯಾಗಿರಲಿಲ್ಲ. ಅವರ ಹೋರಾಟದ ಎಲ್ಲಾ ಕಾರ್ಯತಂತ್ರಗಳನ್ನು ಅವಲೋಕಿಸುತ್ತಾ ಬಂದರೆ, ಅವರಲ್ಲೊಬ್ಬ ಚತುರ ರಾಜಕಾರಣಿ ಇದ್ದನೆಂಬುದು ಸ್ಪಷ್ಟವಾಗುತ್ತದೆ. ಅವರು ಸಮಾಜ ಸುಧಾರಕನ ಕೆಲಸ ಮಾಡಲಿಕ್ಕೆಂದೇ ಸನ್ಯಾಸಿಯ ಪಾತ್ರವನ್ನು ಧರಿಸಿದರೇನೋ ಎಂಬ ಅನುಮಾನ ಬರುತ್ತದೆ. ಕೋಮುವಾದಿ ರಾಜಕಾರಣವನ್ನು ಎದುರಿಸಲು ಇಂದು ಬೇಕಾಗಿರುವುದು ಇಂತಹ ನಾಯಕತ್ವ.
ಅವರು ದೇವಸ್ಥಾನ ಪ್ರವೇಶಾವಕಾಶದ ಬಗ್ಗೆ ಎಂದೂ ಗಂಭೀರವಾಗಿ ಪ್ರಯತ್ನ ನಡೆಸಲಿಲ್ಲ. ಅವರು ಸಾವಿನ ಎಂಟು ವರ್ಷಗಳ ನಂತರ ಕೇರಳ ಸರಕಾರ ದೇವಾಲಯ ಪ್ರವೇಶ ಘೋಷಣೆಯನ್ನು ಹೊರಡಿಸಿತ್ತು. ಆಗಲೇ ನಾರಾಯಣ ಗುರುಗಳು ಕೇರಳ, ಮದ್ರಾಸ್ ಮತ್ತು ಮಂಗಳೂರಿನಲ್ಲಿಯೂ ದೇವಸ್ಥಾನಗಳನ್ನು ಸ್ಥಾಪಿಸಿದ್ದರು. ನೂರಾರು ಗುರುಮಂದಿರ ಹಾಗೂ ಆಶ್ರಮಗಳು ಪ್ರಾರಂಭವಾಗಿದ್ದವು.

ದೇವಸ್ಥಾನಗಳ ಬಗೆಗಿನ ಅವರ ಪರಿಕಲ್ಪನೆಯೇ ಕ್ರಾಂತಿಕಾರಿಯಾದುದು. ಅರವಿಪುರಂನಲ್ಲಿ ಲಿಂಗಸ್ಥಾಪನೆ ಮಾಡಿದ ಗುರುಗಳು ತಮ್ಮ ಕೊನೆಯ ಪ್ರತಿಷ್ಠಾಪನೆಯನ್ನು ಕಳವಂ ಕೋಡಂ ನಲ್ಲಿ ಕನ್ನಡಿಯೊಂದನ್ನು ಸ್ಥಾಪಿಸುವ ಮೂಲಕ ನಡೆಸಿದರು. ಅದರ ನಡುವೆ ಒಂದೆಡೆ ಸತ್ಯ, ಧರ್ಮ, ಶಾಂತಿ, ದಯೆ ಎಂಬ ಸಂದೇಶವನ್ನು ಸಾರುವ ಸಲಕವನ್ನಷ್ಟೇ ಸ್ಥಾಪಿಸಿದರೆ, ಕರಮಕ್ಕು ಎಂಬಲ್ಲಿ ನಂದಾ ದೀಪವನ್ನಷ್ಟೇ ಹಚ್ಚಿದರು. ಕೊನೆಗಾಲದಲ್ಲಿ ಶಿವಗಿರಿಯಲ್ಲಿ ಅವರ ಚಿಂತನೆಯ ಮೂಲಧಾತುವಾದ ಅರಿವು ಸಂಕೇತವಾಗಿ ಸರಸ್ವತಿಯ ಮೂರ್ತಿಯನ್ನು ಪ್ರತಿಷ್ಠಾಪಿಸಿದರೆ, ಶಂಕರಾಚಾರ್ಯರು ಹುಟ್ಟೂರಿಗೆ ಸಮೀಪದ ಅಲ್ವಾಯಿನಲ್ಲಿ ನಿರ್ಮಿಸಿದ ಅದ್ವೆತಾಶ್ರಮದಲ್ಲಿ ಮೂರ್ತಿಯನ್ನೇ ಸ್ಥಾಪಿಸಲಿಲ್ಲ. ಕೊನೆಗಾಲದಲ್ಲಿ ದೇವಸ್ಥಾನಗಳ ಸ್ಥಾಪನೆ ನಿಲ್ಲಿಸಿ ಎಂದು ಅನುಯಾಯಿಗಳಿಗೆ ಕರೆ ನೀಡಿದರು.

ನಾರಾಯಣ ಗುರುಗಳು ತಮ್ಮ ಚಳವಳಿ ಉದ್ದಕ್ಕೂ ದೇವಾಲಯಗಳನ್ನು ಸಾಮಾಜಿಕ ಪರಿವರ್ತನೆಯ ಸಾಧನವಾಗಿ ಬಳಸುತ್ತಾ ಬಂದುದ್ದನ್ನು ಕಾಣಬಹುದು. ಅದು ಸನಾತನ ಧರ್ಮಾವಲಂಭಿಗಳ ಆಶಯಕ್ಕೆ ತದ್ವಿರುದ್ದವಾದದು. ದೇವಾಲಯಗಳ ಪೂಜೆ-ಹವನ-ಹೋಮಗಳಲ್ಲಿ ಮುಳುಗಿ ವ್ಯಾಪಾರಿ ಕೇಂದ್ರಗಳಾಗುವ ಬದಲಿಗೆ ಅವುಗಳನ್ನು ಸಾಮೂಹಿಕ ಪ್ರಾರ್ಥನಾ ಮಂದಿರವಾಗಿ ಉಳಿಸಬೇಕೆಂದು ಅವರು ಬಯಸಿದ್ದರು. ಈ ದೃಷ್ಟಿಯಿಂದ ಅವರ ದೇವಾಲಯದ ಪರಿಕಲ್ಪನೆ ಮಸೀದಿ, ಚರ್ಚುಗಳಿಗೆ ಹೆಚ್ಚು ಹತ್ತಿರವಾಗಿತ್ತು. ದೇವಸ್ಥಾನಗಳ ಭಕ್ತಿ ಪೀಠವಾಗುವದರ ಜೊತೆಯಲ್ಲಿ ಅಧ್ಯಯನ ಕೇಂದ್ರವಾಗಬೇಕು. ಉದ್ಯಾನ, ವಾಚನಾಲಯಗಳನ್ನೊಳಗೊಂಡು ಅವು ಸ್ವಚ್ಛ ಪರಿಸರದಲ್ಲಿ ನಿರ್ಮಾಣಗೊಳ್ಳಬೇಕು ಎಂದು ಅವರು ಹೇಳುತ್ತಿದ್ದರು. ಅವರು ಸ್ಥಾಪಿಸಿದ ಎಲ್ಲಾ ದೇವಾಲಯಗಳು ಈ ಅಭಿಪ್ರಾಯವನ್ನೇ ಬಿಂಬಿಸುತ್ತದೆ.

ನಾರಾಯಣ ಗುರುಗಳದ್ದು ಮುಖಾಮುಖಿ ಹೋರಾಟವಲ್ಲ. ಅವರು ವೈದಿಕಶಾಹಿ ಏಕಸ್ವಾಮ್ಯಕ್ಕೆ ನೇರ ಸವಾಲು ಹಾಕಲಿಲ್ಲ. ಅದರ ಬದಲಿಗೆ ವೈದಿಕ ಆಧಿಪತ್ಯದ ಬೇರುಗಳನ್ನೇ ಅಲ್ಲಾಡಿಸಿದರು. ಸಂಸ್ಕøತವನ್ನು ಸಂಪೂರ್ಣವಾಗಿ ತಿರಸ್ಕರಿಸದೇ ಅದನ್ನು ಅಧ್ಯಯನ ಮಾಡಿ ಶೂದ್ರರೂ ಅದನ್ನು ಕಲಿತು ಅರಗಿಸಿಕೊಳ್ಳಬಹುದು ಎಂದು ತೋರಿಸಿಕೊಟ್ಟರು. ವೇದಾಧ್ಯಯನಕ್ಕೆ ಜಾತಿ ಅಸ್ಪಶ್ಯವಲ್ಲ ಎಂದು ಸಾರಿದ ಗುರುಗಳು ಶಂಕರಾಚಾರ್ಯರ ಅದ್ವೈತ ವೇದಾಂತವನ್ನು ಕಲಿತರು. ಆತ್ಮೋಪದೇಶ ಶತಕಂ ಸೇರಿದಂತೆ ಹಲವಾರು ಸಂಸ್ಕøತ ಗ್ರಂಥಗಳನ್ನು ಬರೆದರು. ಬ್ರಹ್ಮಸೂತ್ರದ ವಿಶ್ಲೇಷಣೆ ಮಾಡಿದ ಮೊದಲ ಅಸ್ಪೃಶ್ಯ ಅವರು.

ದೇವಸ್ಥಾನಗಳಷ್ಟೇ ಸ್ಥಾಪಿಸದೆ ಅಲ್ಲಿ ಅರ್ಚಕರಾಗಿ ಕೆಳವರ್ಗದ ಜಾತಿ ಜನರನ್ನೇ ನೇಮಿಸಿದರು. ಅವರ ತರಬೇತಿಗಾಗಿ ಶಿವಗಿರಿಯಲ್ಲಿ ಬ್ರಹ್ಮ ಮೀಮಾಂಸ ಶಾಲೆಗಳನ್ನು ತೆರೆದು ಬ್ರಹ್ಮ ವಿದ್ಯೆ ಕಲಿಸಿದರು. ಅವರಿಂದ ಸ್ಥಾಪನೆಗೊಂಡ ಬ್ರಹ್ಮ ವಿದ್ಯಾ ಕೇಂದ್ರದಲ್ಲಿ ಈಳವರಲ್ಲದೆ, ಪುಲಯ, ಪರಯ ಮೊದಲಾದ ಇ£್ನತರ ಕೆಳಜಾತಿಯ ಜನರಲ್ಲದೆ, ಮುಸ್ಲಿಂ ಮತ್ತು ಕ್ರಿಶ್ಚಿಯನ್ನರೂ ಆಗಮಶಾಸವನ್ನೊಳಗೊಂಡಂತೆ ವೇದಾಧ್ಯಯನ ಮಾಡುತ್ತಿದ್ದಾರೆ. ದಕ್ಷಿಣ ಕನ್ನಡದಲ್ಲಿ ಬಿಲ್ಲವರ ಜಾತಿಯ ಮದುವೆಯನ್ನು ಬಿಲ್ಲವ ಅರ್ಚಕರೇ ಮಾಡುತ್ತಿದ್ದಾರೆ. ಅವರೆಲ್ಲರೂ ಮೂಲತಃ ಶಿವಗಿರಿಯಲ್ಲಿ ತರಬೇತಿ ಪಡೆದವರು. ಆದರೆ, ಈಗ ಬಿಲ್ಲವ ಸಮುದಾಯದಲ್ಲಿಯೂ ಬೆಳೆಯುತ್ತಿರುವ ನವಬ್ರಾಹ್ಮಣರಿಗೆ ಬಿಲ್ಲವ ಅರ್ಚಕರು ಪಥ್ಯವಾಗುವುದಿಲ್ಲ ಎಂಬುದು ಬೇರೆ ಮಾತು.

ಅರವಿಪುರಂನಲ್ಲಿ ದೇವಾಲಯ ಸ್ಥಾಪನೆ ನಂತರ 1961 ರಲ್ಲಿ ‘ಶ್ರೀ ನಾರಾಯಣ ಗುರು ಧರ್ಮ ಪರಿಪಾಲನಾ ಯೋಗಂ’ ಸ್ಥಾಪನೆಯಾಗುವ ವರೆಗೆ ಕೇರಳ ರಾಜ್ಯ ಮಾತ್ರವಲ್ಲ ತಮಿಳುನಾಡು ಮತ್ತು ಮಂಗಳೂರಿಗೂ ಭೇಟಿ ನೀಡಿ ದೇವಾಲಯಗಳನ್ನು ಸ್ಥಾಪಿಸಿದರು. ಕೆಳವರ್ಗದ ಜನರಲ್ಲಿದ್ದ ಮೂಡನಂಬಿಕೆ ಮತ್ತು ದುಂದುವೆಚ್ಚದ ಅಂಧ ಸಂಪ್ರದಾಯಗಳನ್ನು ಕಿತ್ತೊಗೆಯಲು ಹೋರಾಟ ನಡೆಸಿದರು. ವಿವಾಹಗಳನ್ನು ಸರಳಗೊಳಿಸಿದರು. ವಿವಾಹಕ್ಕೆ ಮಾಡುವ ದುಂದು ವೆಚ್ಚಗಳನ್ನು ವೃದ್ಧಾಪ್ಯದ ದಿನಗಳಿಗಾಗಿ ಉಳಿತಾಯ ಮಾಡುವಂತೆ ಸಲಹೆ ನೀಡಿದರು. ಸಹಭೋಜನಕ್ಕೆ ಪ್ರೋತ್ಸಾಹ ನೀಡಿದರು. ‘ಮದ್ಯವನ್ನು ಮಾಡಬೇಡಿ, ಮಾರಬೇಡಿ ಮತ್ತು ಕುಡಿಯಬೇಡಿ’ ಎಂದು ಹೇಳುವ ಮೂಲಕ ಮದ್ಯಪಾನದ ವಿರುದ್ಧ ವ್ಯಾಪಕ ಚಳವಳಿಯನ್ನೇ ನಡೆಸಿದರು.

ಇದರಿಂದ ಸಾಂಪ್ರದಾಯಿಕವಾಗಿ ಸೇಂದಿ ತೆಗೆಯುವ ವೃತ್ತಿಯನ್ನು ಮಾಡುತ್ತಿದ್ದ ಈಳವರು ಆ ವೃತ್ತಿಯನ್ನು ತ್ಯಜಿಸಿ, ಬೇರೆ ವೃತ್ತಿ ಕೈಗೆತ್ತಿಕೊಳ್ಳುವಂತಾಯಿತು. ಈ ಎಲ್ಲಾ ಸುಧಾರಣೆಗಳನ್ನು ಅವರು ಮೊದಲು ತಮ್ಮ ಶ್ರೀಮಂತ ಅನುಯಾಯಿಗಳ ಮನೆಯಲ್ಲಿಯೇ ಮಾಡಿದರು. ‘ತಾಳಿಕೆಟ್ಟು’, ‘ತಿರುಂಡಕಳಿ’ ಮೊದಲಾದ ಅಂಧಸಂಪ್ರದಾಯಗಳನ್ನು ಆಚರಿಸುವ ಮತ್ತು ಆಡಂಬರದ ಮದುವೆಗಳನ್ನು ಮಾಡುವ ಶ್ರೀಮಂತ ಅನುಯಾಯಿಗಳ ಮನೆಗಳನ್ನೇ ಬಹಿಷ್ಕರಿಸಿದರು.

1916ರಲ್ಲಿ ಶ್ರೀ ನಾರಾಯಣ ಗುರು ಧರ್ಮ ಪರಿಪಾಲನಾ ಯೋಗಂ ಸ್ಥಾಪನೆಯ ಮೂಲಕ ನಾರಾಯಣ ಗುರು ಚಳವಳಿ ಸಂಘರ್ಷದ ಹಾದಿಗೆ ಇಳಿಯಿತು. ಆಗ ಅವರಿಗೆ ಜೊತೆಯಾದವರು ಡಾ.ಪಲ್ಪು, ಪಲ್ಪು ಮತ್ತು ಅವರಣ್ಣ ವೇಲು ಇಬ್ಬರೂ ಕೇರಳದ ಜಾತಿ ವ್ಯವಸ್ಥೆಗೆ ಬಲಿಯಾಗಿ ಹುಟ್ಟೂರಿನಲ್ಲಿ ಶಿಕ್ಷಣ ಮತ್ತು ಉದ್ಯೋಗ ಎರಡೂ ಸಿಗದೆ, ಊರು ಬಿಟ್ಟು ಹೋದವರು.ವೇಲು ಈಳವ ಜನಾಂಗದ ಮೊದಲ ಪದವೀಧರ. ಆತ ಮದ್ರಾಸ್‍ನಲ್ಲಿಯೇ ಕಲಿತು, ಅಲ್ಲಿಯೇ ಸರ್ಕಾರಿ ನೌಕರಿ ಸೇರಿದರೆ, ಪಲ್ಪು ಮದ್ರಾಸ್‍ನಲ್ಲಿ ಓದಿ ಮೈಸೂರಿನಲ್ಲಿ ಸರ್ಕಾರಿ ವೈದ್ಯರಾಗುತ್ತಾರೆ. ಈಳವರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಆಗುತ್ತಿರುವ ಅನ್ಯಾಯವನ್ನು ತಪ್ಪಿಸಬೇಕೆಂದು ಕೋರುವ ಮೊದಲ ಮನವಿಯನ್ನು ತಿರುವಾಂಕೂರಿನ ದಿವಾನರಿಗೆ ಅರ್ಪಿಸುವ ಮೂಲಕ ಡಾ.ಪಲ್ಪು ತನ್ನ ಹೋರಾಟ ಆರಂಭಿಸುತ್ತಾರೆ.

ತಿರುವಾಂಕೂರಿನ ದಿವಾನರು, ವೈಸ್‍ರಾಯ್, ಬ್ರಿಟಿಷ್ ಪಾರ್ಲಿಮೆಂಟ್, ಕಾಂಗ್ರೇಸ್ ಪಕ್ಷ ಹಾಗೂ ಇಂಗ್ಲೀಷ್ ದಿನಪತ್ರಿಕೆಗಳಿಗೆ ಈಳವರ ಸ್ಥಿತಿಯನ್ನು ಮನವರಿಕೆ ಮಾಡಿಕೊಡಲು ಅವರು ಸತತ ಪ್ರಯತ್ನ ನಡೆಸುತ್ತಾರೆ. ಅದಕ್ಕೆ ನಿರೀಕ್ಷಿತ ಫಲ ಸಿಗದಾಗ, ಬೆಂಗಳೂರಿನಲ್ಲಿ ಡಾ.ಪಲ್ಪು ಸ್ವಾಮಿ ವಿವೇಕಾನಂದರನ್ನು ಭೇಟಿಯಾಗುತ್ತಾರೆ. ಕೇರಳದ ಪರಿಸ್ಥಿತಿಯ ಸಂಪೂರ್ಣ ಅರಿವಿದ್ದ ವಿವೇಕಾನಂದರು “ಆದ್ಯಾತ್ಮಿಕ ನಾಯಕರೊಬ್ಬರ ನೇತೃತ್ವದಲ್ಲಿ ಸಾಮಾಜಿಕ ಚಳವಳಿಯನ್ನು ಹುಟ್ಟುಹಾಕಿದರೆ, ಮಾತ್ರ ಕೇರಳದಲ್ಲಿ ಪರಿವರ್ತನೆ ಸಾಧ್ಯ” ಎನ್ನುತ್ತಾರೆ. ಅಲ್ಲಿಂದ ಕೇರಳಕ್ಕೆ ಹಿಂದಿರುಗಿದ ಡಾ.ಪಲ್ಪು ನಾರಾಯಣ ಗುರುಗಳನ್ನು ಭೇಟಿ ಮಾಡುತ್ತಾರೆ.

ಈ ಭೇಟಿಗೆ ಐತಿಹಾಸಿಕ ಮಹತ್ವವಿದೆ. ಇಬ್ಬರ ಮಿಲನದಿಂದಲೇ ಶ್ರೀ ನಾರಾಯಣ ಗುರು ಧರ್ಮಪರಿಪಾಲನಾ ಯೋಗಂ ಸ್ಥಾಪನೆಯಾಗುತ್ತದೆ. ಈಳವರಲ್ಲಿ ‘ಧಾರ್ಮಿಕ ಮತ್ತು ಜಾತ್ಯಾತೀತ ಶಿಕ್ಷಣ ಹಾಗೂ ಉದ್ಯಮಶೀಲ ಮನೋಭಾವನೆ’ಯನ್ನು ಬೆಳೆಸುವುದು ಇದರ ಉದ್ದೇಶವಾಗಿತ್ತು. ಈ ಹಂತದಲ್ಲಿ ಕುಮಾರ ಆಶಾನ್ ಇವರಿಬ್ಬರ ಜೊತೆಯಾಗುತ್ತಾರೆ. ಮೂಲತಃ ಕವಿ ಮತ್ತು ಲೇಖಕನಾಗಿದ್ದ ಆಶಾನ್ ತನ್ನ ಕಾವ್ಯ ಪ್ರತಿಭೆ, ಬರಹ, ಭಾಷಣಗಳ ಮೂಲಕ ಚಳವಳಿಗೆ ಜೀವ ತುಂಬಿದರು. ಅವರ ಸಂಪಾದಕತ್ವದ ವಿವೇಕೋದಯಂ ಪತ್ರಿಕೆ ಚಳವಳಿಯ ಮುಖವಾಣಿಯಾಗಿತ್ತು.

ಎಸ್‍ಎನ್‍ಡಿಪಿ ನೇತೃತ್ವದಲ್ಲಿ ಶಿಕ್ಷಣ ಮತ್ತು ಉದ್ಯೋಗ ಕ್ಷೇತ್ರದಲ್ಲಿನ ಅನ್ಯಾಯದ ವಿರುದ್ಧದ ಹೋರಾಟದ ಕಣಕ್ಕಿಳಿದ ಈಳವರು ಆಗಲೇ ಧಾರ್ಮಿಕ ಚಳುವಳಿಯಿಂದಾಗಿ ಸಾಕಷ್ಟು ಜಾಗೃತರಾಗಿದ್ದರು. ತಮ್ಮದೇ ದೇವಾಲಯಗಳು ಅವರ ಸಂಘಟನೆಗೆ ಶಕ್ತಿ ತುಂಬಿದ್ದವು. ಎಸ್‍ಎನ್‍ಡಿಪಿ ಕೈಗಾರಿಕಾ ಸಮ್ಮೇಳನ ಮತ್ತು ಮಹಿಳಾ ಸಮ್ಮೇಳನಗಳನ್ನು ಯಶಸ್ವಿಯಾಗಿ ನಡೆಸಿತ್ತು. ಹಲವಾರು ಯುವಕರು ಮದ್ರಾಸ್ ಬೆಂಗಳೂರಿಗೆ ಹೋಗಿ ಇಂಗ್ಲೀಷ್ ಆಯುರ್ವೇದ ವ್ಯಾಸಾಂಗ ಮಾಡಿ ಬಂದಿದ್ದರು.

ನಾರಾಯಣ ಗುರುಗಳ ದೂರದರ್ಶಿತ್ವ ಮತ್ತು ಕಾರ್ಯತಂತ್ರ ಅರಿವಾಗುವುದು ಇಲ್ಲಿ. ದೇವಸ್ಥಾನ ಪ್ರವೇಶಕ್ಕೆ ಅವರು ಹೋರಾಟ ನಡೆಸಲಿಲ್ಲ. ಬದಲಿಗೆ ಅವರೇ ದೇವಸ್ಥಾನಗಳನ್ನು ಸ್ಥಾಪಿಸಿದರು. ಆದರೆ, ಶಾಲೆಗಳ ಸ್ಥಾಪನೆಗೆ ಆಡಳಿತದ ಅನುಮತಿ ಬೇಕಿತ್ತು. ಅದಕ್ಕಾಗಿ ಸರ್ಕಾರಿ ಶಾಲೆಗಳ ಪ್ರವೇಶದ ಹಕ್ಕಿನ ಹೋರಾಟಕ್ಕೆ ಅವರು ಚಾಲನೆ ನೀಡಿದರು. ಶಾಲೆಗಳ ಪ್ರವೇಶಕ್ಕಾಗಿ ಎಸ್‍ಎನ್‍ಡಿಪಿ ಹೋರಾಟ ಪ್ರಾರಂಭಿಸಿದರೂ ಅದು ಅಷ್ಟೊಂದು ಸರಳವಾಗಿರಲಿಲ್ಲ. ಈಳವರಲ್ಲಿ ಬೆಳೆಯುತ್ತಿರುವ ಜಾಗೃತಿ ನಂಬೂದಿರಿ ಮತ್ತು ನಾಯರ್ ಜನಾಂಗದಲ್ಲಿ ದ್ವೇಷದ ಕಿಚ್ಚು ಹತ್ತಿಸಿತ್ತು. ದೇವಸ್ಥಾನ ಸ್ಥಾಪನೆಯ ಕಾಲದಲ್ಲಿ ಎದುರಾಗದ ವಿರೋಧ ಈಗ ದಟ್ಟವಾಗತೊಡಗಿತ್ತು. ಎಸ್‍ಎನ್‍ಡಿಪಿ ಚಳವಳಿಯಲ್ಲಿ ಈ ಕಾಲ ನಿರ್ಣಾಯಕವಾದದ್ದು. ಆಗ ಎಲ್ಲೆಡೆ ನಾಯರ್-ಈಳವರ ಸಂಘರ್ಷ ನಡೆಯುತ್ತದೆ. ಈಳವರ ಮೇಲೆ ಬಹಿರಂಗವಾಗಿ ದೌರ್ಜನ್ಯವೆಸಗಲಾಗುತ್ತದೆ.

ಎಸ್‍ಎನ್‍ಡಿಪಿಯನ್ನು ಬೆಂಬಲಿಸುವ ಪತ್ರಿಕೆಗಳ ಕಚೇರಿಯನ್ನು ಸುಟ್ಟು ಹಾಕಲಾಗುತ್ತದೆ.
ಚಳವಳಿಯ ಒತ್ತಡಕ್ಕೆ ಮಣಿದ ತಿರುವಾಂಕೂರು ದಿವಾನರು ಈಳವರಿಗೆ ಅವರದ್ದೇ ಶಾಲೆಗಳನ್ನು ಸ್ಥಾಪಿಸಲು ಅನುಮತಿ ನೀಡುತ್ತಾರೆ. ಸರಕಾರಿ ಶಾಲೆಗಳಲ್ಲಿ ಎಲ್ಲಾ ಜಾತಿ ಜನರಿಗೆ ಮುಕ್ತ ಪ್ರವೇಶ ನೀಡುವ ಮಸೂದೆ ಜಾರಿಗೆ ಬರುತ್ತದೆ. ನಾರಾಯಣ ಗುರು ಚಳವಳಿಯಲ್ಲಿ ದೇವಸ್ಥಾನ ಸ್ಥಾಪನೆಗಿಂತಲೂ ಮುಖ್ಯವಾದ ಘಟನೆಯಿದು. ಇದು ಕುಮಾರ ಆಶಾನ್ ಮತ್ತು ಡಾ.ಪಲ್ಪು ಅವರ ನಾಯಕತ್ವದ ಜಯ. ಆದರೆ, ಸರ್ಕಾರಿ ಸೇವೆಗೆ ಹಿಂದುಳಿದ ಜಾತಿ ಸೇರುವ ಅವಕಾಶವನ್ನು ಕೊನೆಗೂ ತಮ್ಮ ಜೀವಮಾನದಲ್ಲಿ ನಾರಾಯಣ ಗುರುಗಳಿಗೆ ಕಾಣಲಾಗುವುದಿಲ್ಲ. 1936ರಲ್ಲಿ ಸರ್ಕಾರ ಲೋಕಸೇವಾ ಆಯೋಗವನ್ನು ಸ್ಥಾಪಿಸಿ, ಉನ್ನತ ಹುದ್ದೆಗಳನ್ನು ಹೊರತುಪಡಿಸಿ, ಹಿಂದುಳಿದವರಿಗೆ ಶೇ.40ರಷ್ಟು ಮೀಸಲಾತಿಯನ್ನು ನೀಡುತ್ತದೆ.
ಶಿಕ್ಷಣ ಮತ್ತು ಉದ್ಯೋಗದ ಕ್ಷೇತ್ರದಲ್ಲಿನ ಮೀಸಲಾತಿ ಈಳವ ಜನಾಂಗದಲ್ಲಿ ಎರಡೂ ವರ್ಗಗಳ ಬುದ್ಧಿಜೀವಿಗಳ ಸೃಷ್ಟಿಗೆ ಕಾರಣವಾಯಿತು. ಸಾಹಿತಿಗಳು, ಪತ್ರಕರ್ತರು, ಶಿಕ್ಷಕರು ಮತ್ತು ಧಾರ್ಮಿಕ ನಾಯಕರದ್ದು ಒಂದು ಗುಂಪಾದರೆ, ವೈದ್ಯರು, ವಕೀಲರು, ಉದ್ಯಮಿಗಳು, ಆಡಳಿತಾಧಿಕಾರಿಗಳು ಮತ್ತು ರಾಜಕಾರಣಿಗಳು ಇನ್ನೊಂದು ಗುಂಪಿನಲ್ಲಿದ್ದರು.

ಕೇರಳದಲ್ಲಿ ಶಿಕ್ಷಣದ ಪ್ರಸಾರದಲ್ಲಿ ಆರ್.ಶಂಕರ್ ಅವರದ್ದು ನಿರ್ಣಾಯಕ ಪಾತ್ರ. ಇವರು ಸ್ಥಾಪಿಸಿದ್ದ “ಶ್ರೀ ನಾರಾಯಣ ಟ್ರಸ್ಟ್” 1952ರಲ್ಲಿಯೇ ನೂರಾರು ಶಾಲೆ, ಪಾಲಿಟೆಕ್ನಿಕ್, ಶಿಕ್ಷಕ ತರಬೇತಿ ಸಂಸ್ಥೆ ಮತ್ತು ಆಸ್ಪತ್ರೆಗಳನ್ನು ಹೊಂದಿದ್ದವು. ವಾಣಿಜ್ಯ ಮತ್ತು ಉದ್ಯಮ ಕ್ಷೇತ್ರದಲ್ಲಿ ಈಳವರು ಅಭಿವೃದ್ಧಿ ಹೊಂದಿದ್ದರು. ಎಸ್‍ಎನ್‍ಡಿಯ ಮೊದಲ ಅಧಿವೇಶನದ ಕಾಲದಲ್ಲಿಯೇ ನಾರಾಯಣ ಗುರುಗಳು ಕೈಗಾರಿಕಾ ಸಮ್ಮೇಳನವನ್ನು ನಡೆಸಿದ್ದರು. ಆನಂತರ ಅದು ವಾರ್ಷಿಕ ಕಾರ್ಯಕ್ರಮವಾಯಿತು. ತೆಂಗಿನನಾರು ಉದ್ದಿಮೆ ಜನಪ್ರಿಯವಾಗತೊಡಗಿದ್ದು ಅದೇ ಕಾಲದಲ್ಲಿ. ಪ್ರತಿ ದೇವಾಲಯ, ಆಶ್ರಮ ಮತ್ತು ಮಂದಿರಗಳಲ್ಲಿ ತೆಂಗು ನಾರಿನ ಉದ್ದಿಮೆಯ ಘಟಕಗಳನ್ನು ಸ್ಥಾಪಿಸುವಂತೆ ಅವರು ಪ್ರೇರೆಪಿಸಿದ್ದರು. ಈಗ ತೆಂಗುನಾರಿನ ಉದ್ದಿಮೆಯಲ್ಲಿ ಕೇರಳ ದೇಶದಲ್ಲಿಯೇ ಏಕಸ್ವಾಮ್ಯವನ್ನು ಪಡೆದಿದೆ.

ಈ ಹಂತದಲ್ಲಿ ಎಸ್‍ಎನ್‍ಡಿಪಿ ಮುಂದಿನ ಹೋರಾಟವನ್ನು ರಾಜಕೀಯ ಪ್ರಾತಿನಿದ್ಯಕ್ಕಾಗಿ ಕೇಂದ್ರಿಕರಿಸುತ್ತದೆ. ಈ ಹೋರಾಟದಲ್ಲಿ ಅವರಿಗೆ ಕ್ರಿಶ್ಚಿಯನ್ ಮತ್ತು ಮುಸ್ಲಿಂ ಜನಾಂಗಗಳು ಜೊತೆಯಾಗುತ್ತವೆ. ಈ ಮೂರು ಜನಾಂಗಗಳ ಒಟ್ಟು ಜನಸಂಖ್ಯೆ ತಿರುವಾಂಕೂರು ಸಂಸ್ಥಾನದ ಜನಸಂಖ್ಯೆಯ ಮೂರನೇ ಎರಡರಷ್ಟಿತ್ತು. ತಿರುವಾಂಕೂರು ಸಂಸ್ಥಾನದಲ್ಲಿ 1888ರಲ್ಲಿಯೇ ವಿಧಾನಸಭೆ ರಚನೆಯಾಗಿ ಚುನಾವಣೆಗಳು ನಡೆಯುತ್ತಾ ಬಂದಿದ್ದರೂ, 1935ರವರೆಗೆ ನಡೆದ 15 ಚುನಾವಣೆಗಳಲ್ಲಿ ಶೇ.26ರಷ್ಟಿದ್ದ ಈಳವರಲ್ಲಿ ಒಬ್ಬರೂ ಕೂಡ ಆಯ್ಕೆಯಾಗಿರಲಿಲ್ಲ. ಶೇ.22ರಷ್ಟಿದ್ದ ಕ್ರಿಶ್ಚಿಯನ್‍ರು ಮತ್ತು ಶೇ.18ರಷ್ಟಿದ್ದ ಮುಸ್ಲಿಂರ ಪ್ರಾತಿನಿಧ್ಯ ಮೂರು-ನಾಲ್ಕರ ಗಡಿ ದಾಟಿರಲಿಲ್ಲ.

ಐದು ರೂ. ತೆರಿಗೆ ನೀಡುವವರು ಮಾತ್ರ ಮತದಾನದ ಹಕ್ಕು ಪಡೆದಿರುವುದು ಈ ಅನ್ಯಾಯಕ್ಕೆ ಕಾರಣವಾಗಿತ್ತು. ಆ ಕಾಲದ ಭೂಒಡೆತನ ಬಹುಪಾಲು ನಾಯರ್ ಮತ್ತು ನಂಬೂದಿರಿಗಳ ಕೈಯಲ್ಲಿದ್ದ ಕಾರಣ ಉಳಿದ ಜನಾಂಗ ಮತದಾನದ ಹಕ್ಕನ್ನೇ ಪಡೆಯುವುದು ಅಸಾಧ್ಯವಾಗಿತ್ತು. ಇದನ್ನು ಪ್ರತಿಭಟಿಸಲೆಂದೇ ಮೂರು ಜನಾಂಗಗಳು ಕೂಡಿ “ಸಂಯುಕ್ತ ರಾಜಕೀಯ ಸಂಘಟನೆ”ಯನ್ನು ರಚಿಸಿಕೊಂಡು 1935ರ ಚುನಾವಣೆಯನ್ನು ಬಹಿಷ್ಕರಿಸಿತ್ತು. ಈ ಹೋರಾಟಕ್ಕೆ ಮಣಿದ ತಿರುವಾಂಕೂರು ಸಂಸ್ಥಾನ ಜಾತಿ ಪ್ರಮಾಣಕ್ಕೆ ಅನುಗುಣವಾಗಿ ರಾಜಕೀಯ ಮೀಸಲಾತಿ ಘೋಷಿಸಿತು. ಕೇರಳದಲ್ಲಿ ಇಂದು ನಾವು ಕಾಣುತ್ತಿರುವ ರಾಜಕೀಯ ಜಾಗೃತಿಗೆ ಇದು ಮೂಲ ಕಾರಣ.
ಕೇರಳದ ಕಮ್ಯೂನಿಸ್ಟ್ ಪಕ್ಷವನ್ನು ನಾರಾಯಣ ಗುರು ಚಳವಳಿಯ ಮುಂದುವರೆದ ಭಾಗವೆನ್ನಬಹುದು. ಅಧಿಕೃತವಾಗಿ ನಾರಾಯಣ ಗುರು ಚಳವಳಿಗೆ ಎಸ್‍ಎನ್‍ಡಿಪಿಯೇ ಉತ್ತರಾಧಿಕಾರವನ್ನು ಪಡೆದಿದ್ದರೂ ಅದು ಕಮ್ಯೂನಿಸ್ಟ್ ಚಳವಳಿಗೆ ನಾಂದಿಯಾಗಿದ್ದನ್ನು ಇತಿಹಾಸ ಹೇಳುತ್ತದೆ.

ಈ ಬೆಳವಣಿಗೆಗೆ ಮುಖ್ಯವಾಗಿ ಕಾರಣಕರ್ತರಾದವರು ಸಹೋದರ ಅಯ್ಯಪ್ಪನ್.ಪ್ರಗತಿಪರ ಚಿಂತನೆಯ, ನೇರನಡೆನುಡಿಯ ಅಯ್ಯಪ್ಪನ್ ಹುಟ್ಟಿನಿಂದಲೇ ಹೋರಾಟಗಾರ ಮತ್ತು ಅಪ್ರತಿಮ ಧೈರ್ಯಶಾಲಿ. ಜಾತಿ ಶ್ರೇಣಿಯಲ್ಲಿ ಈಳವರಿಗಿಂತ ಕೆಳಗಿದ್ದ ಪುಲಯರ ಜೊತೆ ತಮ್ಮೂರಿನಲ್ಲಿ ಸಹಭೋಜನ ಮಾಡಿಸಿ ಜಾತಿಯಿಂದ ಬಹಿಷ್ಕøತನಾದ ಅಯ್ಯಪ್ಪನ್ ಜಾತಿ ನಿರ್ಮೂಲನೆಯ ಪ್ರಬಲ ಪ್ರತಿಪಾದಕ. ಅಯ್ಯಪ್ಪನ್ ಅವರನ್ನು ಗುರುತಿಸಿದ ಗುರುಗಳು ಅವರನ್ನು ತನ್ನ ಉತ್ತರಾಧಿಕಾರಿಯನ್ನಾಗಿ ಮಾಡುವ ಉದ್ದೇಶ ಹೊಂದಿದ್ದರಂತೆ. ಮೂಲತಃ ನಾಸ್ತಿಕನಾದ ಅಯ್ಯಪ್ಪನ್ “ಸ್ವತಂತ್ರ ಸಮುದಾಯ ಪ್ರತಿಷ್ಠಾನ”ವನ್ನು ಸ್ಥಾಪಿಸಿ ಸಹೋದರ ಎನ್ನುವ ಪತ್ರಿಕೆ ಪ್ರಾರಂಭಿಸಿ ಜಾತಿ ವಿನಾಶ ಚಳವಳಿಯನ್ನು ನಡೆಸುತ್ತಿದ್ದರು. ಅವರನ್ನು ಪುಲಯರ ಅಯ್ಯಪ್ಪನ್ ಎಂದು ಜನ ಗೇಲಿ ಮಾಡುತ್ತಿದ್ದರಂತೆ.

ನಾರಾಯಣ ಗುರುಗಳ ಸಾವಿನ ನಂತರ ಪರಸ್ಪರ ಭಿನ್ನ ವಿಚಾರಧಾರೆಯನ್ನು ಹೊಂದಿದ್ದ ನಾಯಕರು ಎಸ್‍ಎನ್‍ಡಿಪಿಯನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳಲು ಪ್ರಯತ್ನ ಪಟ್ಟಿದ್ದರು. ಮೊದಲನೆಯದಾಗಿ ಮೇಲ್ಜಾತಿ ಜನರ ವೈರಿ ಎಂದು ಬಗೆಯಲಾದ ಬ್ರಿಟಿಷರನ್ನು ಸ್ನೇಹಿತರೆಂದು ತಿಳಿದುಕೊಂಡಿದ್ದ ಮಿತವಾದಿ ಕೃಷ್ಣನ್, ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸುವ ಮೂಲಕವೇ ಈಳವರು ತಮ್ಮ ಹಕ್ಕುಗಳಿಗಾಗಿ ಹೋರಾಟ ನಡೆಸಬೇಕೆಂದು ಹೇಳುತ್ತಿದ್ದ ಕಾಂಗ್ರೇಸ್ ಒಲವಿನ ಟಿ.ಕೆ ಮಾಧವನ್ ಮತ್ತು ಸಿ.ಕೇಶವನ್, ಸಮಾಜವಾದಿ ಮತ್ತು ಪುರೋಗಾಮಿ ವಿಚಾರಧಾರೆಯ ಸಹೋದರ ಅಯ್ಯಪ್ಪನ್ ಅವರ ಸಮಾಜವಾದಿ-ಪುರೋಗಾಮಿ ವಿಚಾರಧಾರೆಗಳನ್ನು ಮೇಳೈಸಲು ಯತ್ನಿಸುತ್ತಿದ್ದ ಇನ್ನೊಂದು ಗುಂಪು ಇದರಲ್ಲಿ ಪ್ರಮುಖವಾದವುಗಳು. ಈ ಕೊನೆಯ ಗುಂಪು ನಂತರದ ದಿನಗಳಲ್ಲಿ ಕಮ್ಯೂನಿಸ್ಟ್ ಪಕ್ಷ ಅಸ್ತಿತ್ವಕ್ಕೆ ಬರಲು ಕಾರಣವಾಯಿತು.

1937ರಲ್ಲಿ ಕೇರಳದಲ್ಲಿ ಕಮ್ಯೂನಿಷ್ಟ ಪಕ್ಷ ಪಿ.ಕೃಷ್ಣಪಿಳ್ಳೆ ಮತ್ತು ಇ.ಎಂ.ಎಸ್ ನಂಬೂದಿರಿ ಪಾಡ್ ನೇತೃತ್ವದಲ್ಲಿ ಸ್ಥಾಪನೆಯಾಯಿತು. ಎಸ್‍ಎನ್‍ಡಿಪಿಯ ಅಯ್ಯಪ್ಪನ್, ದಾಮೋದರನ್, ಸುಕುಮಾರನ್ ಮೊದಲಾದವರು ಕಮ್ಯೂನಿಸ್ಟ್ ಪಕ್ಷವನ್ನು ಬೆಂಬಲಿಸುತ್ತಿದ್ದರೆ ಸಿ.ಕೇಶವನ್, ಟಿ.ಕೆ ಮಾಧವನ್ ಮತ್ತು ಆರ್.ಶಂಕರ್ ಕಾಂಗ್ರೇಸ್ ಒಲವುಳ್ಳವರಾಗಿದ್ದರು. ವಿಪರ್ಯಾಸವೆಂದರೆ ಎಸ್.ಎನ್.ಡಿ.ಪಿ ಚಳವಳಿಯಿಂದ ಜಾಗೃತರಾದ ಕೆಳವರ್ಗದ ಜನಸಮೂಹ ಎಡಪಕ್ಷಗಳ ಕಡೆ ಆಕರ್ಷಿತರಾಗಿದ್ದರು. ಅವರಲ್ಲಿ ಭೂ ಹೀನ ಕಾರ್ಮಿಕರು, ಗೇಣಿದಾರರು, ಸೇಂದಿ ತೆಗೆಯುವವರು, ಪ್ಲಾಂಟೇಷನ್ ಕಾರ್ಮಿಕರು, ಗೇರುಬೀಜ ಕಾರ್ಖಾನೆ ಕಾರ್ಮಿಕರು ಮೊದಲಾದವರಿದ್ದರು. ಆ ವರ್ಗಗಳಲ್ಲಿ ಸಕ್ರಿಯವಾಗಿದ್ದ ಕಾರ್ಮಿಕರ ಸಂಘಟನೆಗಳು ಮಾತ್ರ ಕಮ್ಯೂನಿಸ್ಟ್ ಪಕ್ಷಕ್ಕೆ ಸೇರಿದ್ದಾಗಿತ್ತು.
ಕಮ್ಯೂನಿಷ್ಟ್ ಪಕ್ಷದಲ್ಲಿ ನಾಯಕತ್ವ ಮಾತ್ರ ಈಳವ, ಪುಲಯ, ಪರವರ ಕೈಗೆ ಬರಲಿಲ್ಲ. ಅದು ನಂಬೂದಿರಿ, ನಾಯರ್ ಕೈಯಲ್ಲಿ ಭದ್ರವಾಗಿಯೇ ಉಳಿದಿದೆ.

ಮುಖ್ಯಮಂತ್ರಿಯಾಗುವ ಎಲ್ಲಾ ಅರ್ಹತೆ ಪಡೆದಿದ್ದ ಹಿರಿಯ ನಾಯಕಿ ಕೆ.ಆರ್ ಗೌರಿ ಅವಕಾಶವಂಚಿತರಾಗಿದ್ದು ಇದಕ್ಕೆ ಒಂದು ಉದಾಹರಣೆ ಕಾಂಗ್ರೇಸ್ ಪಕ್ಷವು ಈಳವರಿಗೆ ರಾಜಕೀಯ ಅಧಿಕಾರವನ್ನು ನೀಡಿತು. 1951ರ ಚುನಾವಣೆಯಲ್ಲಿ ಕಾಂಗ್ರೇಸ್ ಪಕ್ಷ ಅಧಿಕಾರಕ್ಕೆ ಬಂದಾಗ ಸಿ.ಕೇಶವನ್ ಮುಖ್ಯಮಂತ್ರಿಯಾದರು. 1962ರಲ್ಲಿ ಆರ್. ಶಂಕರ್ ಮುಖ್ಯಮಂತ್ರಿಯಾದರು. 1971ರಲ್ಲಿ ಅಲ್ಲಿನ ವಿಧಾನಸಭೆಯಲ್ಲಿ 28 ಈಳವ ಶಾಸಕರಿದ್ದರು. ಇಂದು ಕೂಡಾ ಕೇರಳದಲ್ಲಿ ಎಸ್.ಡಿ.ಪಿ ಮತ್ತು ನಾರಾಯಣ ಗುರುಗಳು ಸ್ಥಾಪಿಸಿದ್ದ ದೇವಾಲಯಗಳು ಹಾಗೂ ಸನ್ಯಾಸಿ ಸಂಘದ ಮೇಲೆ ನಿಯಂತ್ರಣ ಸ್ಥಾಪಿಸಲು ಕಾಂಗ್ರೇಸ್ ಮತ್ತು ಎಡಪಕ್ಷಗಳ ನಡುವೆ ಸಂಘರ್ಷ ನಡೆಯುತ್ತಿದೆ. ಎಸ್.ಎನ್.ಡಿ.ಪಿ, ಶ್ರೀ ನಾರಾಯಣ ಟ್ರಸ್ಟ್ ಮತ್ತು ಸನ್ಯಾಸಿ ಸಂಘ ಇಂದು ಕೋಟ್ಯಾಂತರ ರೂಪಾಯಿ ಮೌಲ್ಯದ ಆಸ್ತಿ ಹೊಂದಿದೆ.

ಮೇಲ್ಜಾತಿ ಜನರೂ ಸೇರಿದಂತೆ, ಎಲ್ಲ ವರ್ಗಗಳೊಳಗಿನಿಂದಲೂ ಸುಧಾರಣೆಯ ಧ್ವನಿ ಏಳುವಂತೆ ಮಾಡಿದ್ದು ನಾರಾಯಣಗುರು ಚಳವಳಿಯ ಇನ್ನೊಂದು ಸಾಧನೆ. ನಾಯರ್ ಸೇವಾ ಸಂಘ, ಪುಲಯ ಮಹಾಜನ ಸಭಾ ಮತ್ತು ನಂಬೂದಿರಿಗಳ ಯೋಗಕ್ಷೇಮ ಸಭಾಗಳು ಎಸ್.ಎನ್.ಡಿ.ಪಿ ಮಾದರಿಯಲ್ಲಿಯೇ ತಮ್ಮ ಜನಾಂಗಗಳ ಸುಧಾರಣೆಗೆ ಪ್ರಯತ್ನ ನಡೆಸಿದವು. ಸುಧಾರಣಾ ಚಳವಳಿಯಲ್ಲಿ ಭಾಗವಹಿಸಿದ್ದ ನಂಬೂದಿರಿ ಯುವಕರು ಬಹುಬೇಗನೆ ಕಮ್ಯೂನಿಸ್ಟ್ ಪಕ್ಷದತ್ತ ಆಕರ್ಷಿತರಾದರು. ಮುಂದೆ ಕಮ್ಯುನಿಸ್ಟ್ ಪಕ್ಷದ ನಾಯಕತ್ವ ನಂಬೂದಿರಿ, ನಾಯರ್‍ಗಳ ಪಾಲಾಗಿ ಇತಿಹಾಸ ಮರುಕಳಿಸಿದ್ದನ್ನು ಕಾಣಬಹುದು.

ನಾರಾಯಣ ಗುರು ಚಳವಳಿ ಕೇರಳದಲ್ಲಿ ನಡೆಯದೇ ಹೋಗಿದ್ದರೆ, ಏನಾಗುತ್ತಿತ್ತು ಎಂಬ ಪ್ರಶ್ನೆಗೆ ರಾಜಗೋಪಾಲಚಾರಿ ಅವರು ಆ ಚಳವಳಿ ನಡೆಯುತ್ತಿದ್ದ ಕಾಲದಲ್ಲಿಯೇ ಉತ್ತರ ನೀಡಿದ್ದರು. ತಿರುವಾಂಕೂರು ಸಂಸ್ಥಾನದ ದಿವಾನರು ದೇವಸ್ಥಾನ ಪ್ರವೇಶ ಘೋಷಣೆ ಹೊರಡಿಸಲು ವಿಳಂಬ ಮಾಡುತ್ತಿದ್ದನ್ನು ಕಂಡ ರಾಜಗೋಪಾಲಾಚಾರಿಯವರು ದಿವಾನರಿಗೆ ಪತ್ರ ಬರೆದು “ನಾರಾಯಣ ಗುರುಗಳ ಸುಧಾರಣಾ ಚಳವಳಿ ನಡೆಯದಿದ್ದರೆ, ಕೇರಳದಲ್ಲಿನ ಅರ್ಧಕ್ಕೂ ಹೆಚ್ಚಿನ ಜನಸಂಖ್ಯೆ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರವಾಗಿ ಹೋಗುತ್ತಿದ್ದರು” ಎಂದು ಎಚ್ಚರಿಸಿದ್ದರು. ಕೇರಳದ ಆಗಿನ ಸ್ಥಿತಿಯಲ್ಲಿ ಈ ಎಚ್ಚರಿಕೆ ಉತ್ಪ್ರೇಕ್ಷೆ ಆಗಿರಲಿಲ್ಲ. ವಾಸ್ಕೋಡಗಾಮ ಮೊದಲು ಬಂದಿಳಿದ ಕೇರಳದಲ್ಲಿ ಕ್ರಿಶ್ಚಿಯನ್ ಮಿಷನರಿಗಳು ಉಳಿದೆಲ್ಲಾ ಕಡೆಗಳಿಗಿಂತ ಹೆಚ್ಚು ಕ್ರೀಯಾಶೀಲವಾಗಿದ್ದವು. ನಾರಾಯಣಗುರುಗಳ ಪ್ರವೇಶವಾಗುವ ಮೊದಲು ಅಲ್ಲಿ ಜಾತಿ ಆಧಾರಿತ ದೌರ್ಜನ್ಯದಿಂದ ಬೇಸತ್ತ ಕೆಳವರ್ಗದ ಜನ ಸಾಮೂಹಿಕವಾಗಿ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡಿದ್ದರು. ಈಶಾನ್ಯ ರಾಜ್ಯಗಳನ್ನು ಹೊರತುಪಡಿಸಿದರೆ, ದೇಶದಲ್ಲಿ ಅತಿಹೆಚ್ಚು ಕ್ರಿಶ್ಚಿಯನ್ ಜನಸಂಖ್ಯೆ ಇರುವ ರಾಜ್ಯ ಕೇರಳ. ಅಲ್ಲಿ ಶೇ.24ರಷ್ಟು ಕ್ರಿಶ್ಚಿಯನ್‍ರು ಇರುವುದು ಈ ಮತಾಂತರಕ್ಕೆ ಸಾಕ್ಷಿ.

ನಾರಾಯಣ ಗುರುಗಳ ಚಳವಳಿಯುದ್ದಕ್ಕೂ ಹಲವಾರು ಬಾರಿ ತಮ್ಮ ಅನುಯಾಯಿಗಳಿಂದಲೆ ಮತಾಂತರದ ಬೆದರಿಕೆಯನ್ನು ಎದುರಿಸಿದ್ದರು. ವೈಕಂ ಸತ್ಯಾಗ್ರಹದ ಕಾಲದಲ್ಲಿ ಮತ್ತು ಅದಕ್ಕಿಂತ ಮೊದಲು ಮತಾಂತರದ ವಿಚಾರ ಮತ್ತೇ ಎಸ್.ಎನ್.ಡಿ.ಪಿಯಲ್ಲಿ ದೊಡ್ಡ ವಿವಾದ ಸೃಷ್ಟಿಸಿತ್ತು. ಗುರುಗಳ ಪ್ರಮುಖ ಶಿಷ್ಯರಲ್ಲಿ ಸಿ.ವಿ ಕುಂಜುರಾಮನ್ ಕ್ರಿಶ್ಚಿಯನ್ ಮತಾಂತರವನ್ನು ಪ್ರತಿಪಾದಿಸುತ್ತಿದ್ದರೆ, ಸಹೋದರ ಅಯ್ಯಪ್ಪನ್ ಮತ್ತು ಸಿ.ಕೃಷ್ಣನ್ ಬೌದ್ಧ ಧರ್ಮದ ಪರ ಒಲವು ತೋರಿಸಿದ್ದರು. ಕುಮಾರ ಆಶಾನ್ ಕೂಡ ಬೌದ್ಧ ಧರ್ಮದ ಕಡೆ ಆಕರ್ಷಿತರಾಗಿದ್ದರೂ ಬಹಿರಂಗವಾಗಿ ಅಭಿಪ್ರಾಯ ವ್ಯಕ್ತಪಡಿಸಿರಲಿಲ್ಲ. ಟಿ.ಕೆ ಮಾಧವನ್ ಮತಾಂತರವನ್ನೇ ವಿರೋಧಿಸುತ್ತಿದ್ದರು.

ಎಸ್.ಎನ್.ಡಿ.ಪಿ ಅಸ್ತಿತ್ವವನ್ನೇ ಅಲುಗಾಡಿಸಿದ ಈ ವಿವಾದ ನಾರಾಯಣ ಗುರುಗಳಿಗೆ ಒಂದು ಸವಾಲಾಗಿತ್ತು. ತಕ್ಷಣ ಸ್ವಾಮಿಗಳು ಅಲ್ವಾಯಿಯಲ್ಲಿ 1924 ಪೆಬ್ರುವರಿಯಲ್ಲಿ ಎರಡು ದಿನಗಳ ಸರ್ವಧರ್ಮ ಸಮ್ಮೇಳನ ನಡೆಸಿದರು. ಈ ಸಮ್ಮೇಳನ ನಡೆಯುತ್ತಿರುವುದು “ತರ್ಕ ನಡೆಸುವದಕ್ಕಾಗಲಿ, ಗೆಲ್ಲುವುದಕ್ಕಾಗಲಿ ಅಲ್ಲ. ಪರಸ್ಪರ ತಿಳಿದುಕೊಳ್ಳುವುದು ಮತ್ತು ತಿಳಿಸಿಕೊಡುವುದು ಇದರ ಉದ್ದೇಶ” ಎಂದು ನಾರಾಯಣ ಗುರುಗಳು ಘೋಷಿಸಿದ್ದರು. ಸ್ವಾಮಿಗಳು “ಒಂದು ಜಾತಿ, ಒಂದು ಮತ, ಒಂದೇ ದೇವರು” ಎಂಬ ಸಂದೇಶ ಸಾರಿದರು. ಮನುಷ್ಯ ಬದಲಾದರೆ, ಜಾತಿ ಬದಲಾಯಿಸಬೇಕಾದ ಅಗತ್ಯ ಇಲ್ಲವೆಂದು ಅವರು ಹಿಂದೂ ಧರ್ಮದ ನಾಯಕರನ್ನು ಉದ್ದೇಶಿಸಿ ಹೇಳಿದರು. ಮತಾಂತರದ ವಿವಾದ ಅಲ್ಲಿಗೆ ತಣ್ಣಗಾಯಿತು.

ಕೇರಳದಿಂದಾಚೆಗೆ ತಮಿಳುನಾಡು ಹಾಗೂ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯನ್ನು ಹೊರತು ಪಡಿಸಿದರೆ, ಬೇರೆಡೆ ನಾರಾಯಣ ಗುರು ಚಳವಳಿ ಹೆಚ್ಚು ಪರಿಚಿತವಲ್ಲ. ನಾರಾಯಣ ಗುರುಗಳ ಶಿಷ್ಯರೇ ಆದ ಡಾ.ಪಲ್ಪು ಅವರ ಮಗ ನಟರಾಜ ಗುರು ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುಗಳ ಚಿಂತನೆಯ ಪ್ರಸಾರ ಮಾಡಿದರು. ಅವರು ಶಿವಗಿರಿಯ ಸಮೀಪ ಸ್ಥಾಪಿಸಿರುವ ಈಸ್ಟ್‍ವೆಸ್ಟ್ ವಿಶ್ವವಿದ್ಯಾಲಯವಿದೆ. ಆದರೆ, ಕೇರಳ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ನೂರಾರು ಗುರುಮಂದಿರಗಳಲ್ಲಿ ಅವರಿಗಾಗಿಯೇ ಕಟ್ಟಿದ ದೇವಾಲಯಗಳಲ್ಲಿ ನಾರಾಯಣ ಗುರುಗಳ ಆರಾಧನೆ-ಭಜನೆಗಳು ಕೂಡ ನಾರಾಯಣನೆಂಬ ಈ “ನರ”ನ ಸಾಧನೆಯ ನೈಜ ಚಿತ್ರಣ ನೀಡಲು ವಿಫಲವಾಗಿವೆ. ಸಾವಿರಾರು ವರ್ಷಗಳಿಂದ ಬೇರುಬಿಟ್ಟ ವೈದಿಕಷಾಹಿ, ಫ್ಯಾಸಿಸ್ಟ್ ಶಕ್ತಿ ತನ್ನನ್ನು ಪ್ರಶ್ನಿಸಿದವರನ್ನು ನಾಶ ಮಾಡಲು ಪ್ರಯತ್ನಿಸುತ್ತದೆ. ಸಾಧ್ಯವಾಗದಿದ್ದರೆ, ತನ್ನೊಳಗೆ ಜೀರ್ಣಿಸಿಕೊಂಡು ಬಿಡುತ್ತದೆ. ಬುದ್ಧ ವಿಷ್ಣುವಿನ ಅವತಾರವಾದ, ಬಸವಣ್ಣ ನಂದಿಯಾದ ದುರಂತವೇ ನಾರಾಯಣ ಗುರುಗಳಿಗಾಗಿದೆ. ಸನ್ಯಾಸಿಯಾದ ದಿನದಿಂದ ಸಾವಿನವರೆಗೂ ಕೇರಳದ ಅತ್ಯಂತ ಕೀಳು ಜಾತಿಯವರೆನಿಸಿದ ಪುಲಯ ಜನಾಂಗದ ಅಡಿಗೆಯವನಿಂದಲೇ ಕೈತುತ್ತು ತಿಂದು ಬದುಕಿದ ನಾರಾಯಣ ಗುರುಗಳು ಇಂದು ಈಳವ – ಬಿಲ್ಲವ ಜಾತಿ ಜನರ ನಾಯಕನಾಗಿಬಿಟ್ಟಿದ್ದಾರೆ.

ವಿದ್ಯೆಯಿಂದ ಸ್ವತಂತ್ರರಾಗಿರಿ ಎಂದ ಗುರುಗಳ ಚಿಂತನೆಯನ್ನು ವಿದ್ಯೆ ಎಂದರೆ, ಅಕಾಡೆಮಿಕ್ ಶಿಕ್ಷಣ ಎಂದು ತಿಳಿದ ಕಾರಣದಿಂದಾಗಿಯೇ ಅವರ ಅನುಯಾಯಿಗಳೆನಿಸಿಕೊಂಡವರಲ್ಲಿ ಬಹಳಷ್ಟು ಮಂದಿ ಇಂದಿಗೂ ಬೌದ್ಧಿಕ ದಾಸ್ಯದಿಂದ ಮುಕ್ತವಾಗಿಲ್ಲ. ಹಾಗಿಲ್ಲದಿದ್ದರೆ, ವರ್ಣಾಶ್ರಮ ವ್ಯವಸ್ಥೆಗೆ ಸವಾಲಾಗಿ ನಾರಾಯಣ ಗುರುಗಳು ಮಂಗಳೂರಿನ ಕುದ್ರೋಳಿಯಲ್ಲಿ ಸ್ಥಾಪಿಸಿದ್ದ ದೇವಾಲಯವನ್ನು ಜೀರ್ಣೋದ್ಧಾರಗೊಳಿಸಿದ ಅವರ ಅನುಯಾಯಿಗಳು, ಅದನ್ನು ವರ್ಣಾಶ್ರಮ ವ್ಯವಸ್ಥೆಯನ್ನು ಪ್ರತಿಪಾದಿಸುವ ಶೃಂಗೇರಿ ಮಠದ ಸ್ವಾಮಿಗಳಿಂದ ಉದ್ಘಾಟನೆ ಮಾಡಿಸುತ್ತಿರಲಿಲ್ಲ. ಒಂದು ಜಾತಿ, ಒಂದು ಮತ, ಒಂದೇ ದೇವರು ಎಂದು ಸಾರಿದ ನಾರಾಯಣ ಗುರುಗಳು ಒಂದು ಜಾತಿಯ ಮಂದಿರಗಳಲ್ಲಿ ಬಂಧಿಯಾಗುತ್ತಿರಲಿಲ್ಲ. ಈ ‘ಭಕ್ತಸಮೂಹ’, ‘ಭಜನಾಮಂಡಳಿ’ಗಳಿಂದ ನಾರಾಯಣ ಗುರುಗಳನ್ನು ಬಿಡುಗಡೆಗೊಳಿಸಿ ಅವರನ್ನು ಎಲ್ಲರಿಗೂ ಸಲ್ಲುವ ಗುರುಗಳನ್ನಾಗಿ ಮಾಡಬೇಕಾಗಿದೆ. ಈ ಮೂಲಕವೇ ಕೋಮುವಾದಿ ರಾಜಕಾರಣಕ್ಕೆ ಪ್ರತಿಯಾಗಿ ‘ಸಾಮಾಜಿಕ ನ್ಯಾಯದ’ ರಾಜಕಾರಣವನ್ನು ರೂಪಿಸುವ ಕಾರ್ಯ ನಡೆಯಬೇಕಾಗಿದೆ. ಇದು ‘ಹಿಂದುತ್ವದ ಪ್ರಯೋಗಶಾಲೆ’ ಎಂಬ ಕುಖ್ಯಾತಿಗೆ ಈಡಾದ ದಕ್ಷಿಣಕನ್ನಡದಿಂದಲೇ ಪ್ರಾರಂಭವಾಗಬೇಕು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ತತ್ವಪದಗಳು ಸಾರ್ವಕಾಲಿಕ ಬೆಳಕನಿಧಿ: ಕಾ.ತ.ಚಿಕ್ಕಣ್ಣ

Published

on

ಸುದ್ದಿದಿನ,ಬೆಂಗಳೂರು:ತತ್ವಪದಗಳು ಎಲ್ಲ ಕಾಲಕ್ಕೂ ಸಲ್ಲುವಂತಹ ಬೆಳಕನ್ನು ನೀಡುವ ಸೃಜನಶೀಲ ಸಂರಚನೆಗಳಾಗಿವೆ ಎಂದು ಕರ್ನಾಟಕ ಸರ್ಕಾರದ ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ಅಧ್ಯಕ್ಷರಾದ ಶ್ರೀ ಕಾ.ತ.ಚಿಕ್ಕಣ್ಣ ಅವರು ಅಭಿಪ್ರಾಯಪಟ್ಟರು.

ಬೆಂಗಳೂರಿನ ಕೆ.ನಾರಾಯಣಪುರದ ಕ್ರಿಸ್ತು ಜಯಂತಿ ಡೀಮ್ಡ್ ವಿಶ್ವವಿದ್ಯಾನಿಲಯದ ಕನ್ನಡ ವಿಭಾಗ ಹಾಗೂ ಕರ್ನಾಟಕ ಸರ್ಕಾರದ ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ‘ಕನ್ನಡ ತತ್ವಪದ ಸಾಹಿತ್ಯ: ಸಾಂಸ್ಕೃತಿಕ ಅನುಸಂಧಾನ’ ವಿಷಯ ಕುರಿತಾದ ಒಂದು ದಿನದ ರಾಷ್ಟ್ರೀಯ ವಿಚಾರಸಂಕಿರಣದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕನ್ನಡ ಸಾಹಿತ್ಯ ಚರಿತ್ರೆಯಲ್ಲಿ ತತ್ವಪದ ಸಾಹಿತ್ಯ ರೂಪುಗೊಂಡಿದ್ದ ಕಾಲವನ್ನು ಕತ್ತಲಯುಗ ಎಂದು ಕರೆದು ವಿಸ್ಮೃತಿಗೆ ತಳ್ಳಲಾಗಿತ್ತು. ಆದರೆ ಆ ಕತ್ತಲೆಯುಗದಲ್ಲಿಯೇ ಜಗತ್ತಿಗೆ ಮಹೋನ್ನತ ಬೆಳಕು ನೀಡುವ ನುಡಿರತ್ನಗಳು ರಚನೆಗೊಂಡಿದ್ದವು. ತತ್ವಪದಕಾರರು ಪರಂಪರೆಯೊಂದಿಗೆ ಸಂವಾದ ನಡೆಸುತ್ತಾ ವರ್ತಮಾನಕ್ಕೆ ಸೂಕ್ತವಾಗಿ ಅನ್ವಯವಾಗುವ ಹಾಗೂ ಭವಿಷ್ಯಕ್ಕೆ ಬೇಕಾದ ಜಾಗೃತಿಯನ್ನು ನೀಡುವ ಮೂಲಕ ಕನ್ನಡ ಸಂಸ್ಕೃತಿಯಲ್ಲಿ ತಮ್ಮದೇ ಆದ ಮೌಲ್ಯಯುತ ಸ್ಥಾನವನ್ನು ಪಡೆದುಕೊಂಡಿವೆ. ಸಮಾಜದಲ್ಲಿರುವ ಜಾತಿಭೇದ, ಲಿಂಗಭೇದ, ವರ್ಣಭೇದ ಮೊದಲಾದ ವಿಷಕಾರಿ ಮನಸ್ಥಿತಿಗೆ ತತ್ವಪದಕಾರರು ತಮ್ಮ ನುಡಿ-ನಡೆಗಳ ಮೂಲಕ ಚಿಕಿತ್ಸೆ ನೀಡುವ ಮೂಲಕ ಬದುಕಿನ ಸತ್ಯ ಮತ್ತು ಸಾರ್ಥಕತೆಯನ್ನು ಸಾಧಿಸಿತೋರಿದ್ದಾರೆ ಎಂದು ತಿಳಿಸಿದರು.

ವಿಶ್ವಾತ್ಮಕವಾದ ಸಂವೇದನೆಯ ತತ್ವಪದ ಸಾಹಿತ್ಯ

ವಿಚಾರಸಂಕಿರಣವನ್ನು ಉದ್ಘಾಟನೆ ಮಾಡಿದ ಕ್ರಿಸ್ತು ಜಯಂತಿ ವಿವಿಯ ಸಂಸೋಧನೆ ಮತ್ತು ಅಭಿವೃದ್ಧಿ ವಿಭಾಗದ ನಿರ್ದೇಶಕರಾದ ಫಾ.ಡಾ.ಮರಿಯಾಲಾಲ್ ಜೋಸೆಫ್ ಅವರು, ಕನ್ನಡದ ತತ್ವಪದಗಳು ಜನಸಾಮಾನ್ಯರ ವೇದಗಳಾಗಿವೆ. ಕನ್ನಡ ಸಾಹಿತ್ಯಕ್ಕೆ ಸಂಗೀತಾತ್ಮಕ ಶಾಸ್ತ್ರೀಯ ಸಂರಚನೆಯ ಜೊತೆಗೆ ವಿಶ್ವಾತ್ಮಕವಾದ ಸಂವೇದನೆಯ ಮೂಲಕ ಮಹತ್ತರವಾದ ಕೊಡುಗೆ ನೀಡಿದ್ದು ತತ್ವಪದ ಸಾಹಿತ್ಯ.

ಮಧ್ಯಯುಗೀನ ಕಾಲದ ಭಕ್ತಿಚಳವಳಿಯ ಭಾಗವಾಗಿ ಮೂಡಿಬಂದ ವಚನ ಸಾಹಿತ್ಯ ಹಾಗೂ ಕೀರ್ತನ ಸಾಹಿತ್ಯಗಳು ಕರ್ನಾಟಕದಲ್ಲಿ ಮೂಡಿಸಿದ ಸಾಂಸ್ಕೃತಿಕ ಚೈತನ್ಯಶೀಲತೆಯನ್ನು ನಂತರದಲ್ಲಿ ಮುಂದುವರೆಸುವ ಮೂಲಕ ಮತ್ತಷ್ಟು ಎತ್ತರಕ್ಕೆ ಕೊಂಡೊಯ್ದದ್ದು ತತ್ವಪದ ಸಾಹಿತ್ಯವಾಗಿದೆ. ಇಂದಿನ ಆವೇಗದ ಆಧುನಿಕ ಜಗತ್ತಿಗೆ ತತ್ವಪದಕಾರರು ನೀಡಿದ ಅರಿವಿನ ಬೆಳಕು ಅತ್ಯಗತ್ಯವಾಗಿದೆ ಎಂದು ಅಭಿಪ್ರಾಯಪಟ್ಟರು.

ನಿಜತ್ವ ಬೆಳಗುವ ದಾರಿದೀಪ ತತ್ವಪದಗಳು-ಪದ್ಮಾಲಯ ನಾಗರಾಜ್: ಪ್ರಧಾನಗೋಷ್ಠಿಯ ಅಧ್ಯಕ್ಷತೆ ವಹಿಸಿ ತತ್ವಪದಗಳ ಸಾಂಸ್ಕೃತಿಕ ಮಹತ್ವ ಕುರಿತು ಮಾತನಾಡಿದ ಅಚಲ ಸಾಧಕರಾದ ಪದ್ಮಾಲಯ ನಾಗರಾಜ್ ಅವರು, ಜಗತ್ತಿನಾದ್ಯಂತ ಇಂದು ನಡೆಯುತ್ತಿರುವ ಅಧಿಕಾರ ಹಾಗೂ ವ್ಯಾಪಾರದಾಹೀ ರಾಜಕೀಯ ಲಂಪಟ, ಆರ್ಥಿಕ ಲಂಪಟ ಹಾಗೂ ಸಾಮಾಜಿಕ ಅಸಮಾನ ಸೃಷ್ಟಿಗಳು ಮಾನವಲೋಕವನ್ನು ಭ್ರಮೆ ಮತ್ತು ಅಸತ್ಯದತ್ತ ಕೊಂಡೊಯ್ಯುತ್ತಿವೆ. ಅವೈಜ್ಞಾನಿಕ ಕಲ್ಪನೆಗಳನ್ನು ಹುಟ್ಟುಹಾಕುತ್ತಾ ವಾಸ್ತವಿಕತೆಯಿಂದ ದೂರಮಾಡುತ್ತಿವೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ನಿರಂತರ ಆಗುವಿಕೆಯ ಅನಂತವಿಶ್ವದಲ್ಲಿ ನಾವೊಂದು ಬಿಂದುವೆಂಬ ಸತ್ಯದರ್ಶನ ಮಾಡಿಸುವ ಮೂಲಕ ನಿಜತ್ವವನ್ನು ಬೆಳಗುವ ದಾರದೀಪವಾಗಿವೆ ತತ್ವಪದಗಳು ಎಂದು ತಿಳಿಸಿದರು.

‘ತತ್ವಪದಕಾರ್ತಿಯರ ಲೋಕದೃಷ್ಠಿ’ಯನ್ನು ಕುರಿತು ವಿಚಾರಮಂಡನೆ ಮಾಡಿದ ಡಾ.ಶೋಭಾರಾಣಿ ಎನ್. ಅವರು, ‘ತತ್ವಪದಕಾರ್ತಿಯರು ಸಂಸಾರದ ಸಹಯಾನದೊಂದಿಗೇ ಅಧ್ಯಾತ್ಮಿಕ ಸಾಧನೆಯನ್ನು ಮಾಡಬಹುದೆಂದು ಸಾಧಿಸಿತೋರಿದ್ದಾರೆ. ನಿರ್ಭೀತ ನುಡಿಕಾರರು ತತ್ವಪದಕಾರ್ತಿಯರು. ಮಹಿಳಾ ತತ್ವಪದಕಾರರ ಇನ್ನೂ ಎಷ್ಟೋ ತತ್ವಪದಗಳು ಸಂಗ್ರಹವಾಗಬೇಕಿದೆ’ ಎಂದು ಅಭಿಪ್ರಯಪಟ್ಟರು.

‘ಕನ್ನಡ ತತ್ವಪದಗಳು ಮತ್ತು ಬಹುತ್ವ ಭಾರತ’ ಕುರಿತು ಮಾತನಾಡಿದ ರವಿ ಕಂಬಳಿ ಅವರು, ಬಹುಸಂಸ್ಕೃತಿಗಳಿರುವ ಭಾರತದಲ್ಲಿ ಏಕರೂಪೀತನದ ಯಾಜಮಾನ್ಯ ಹೇರುವ ದೌರ್ಜನ್ಯ ಹಾಗೂ ಸಮಸ್ಯೆಗಳಿಗೆ ಪ್ರತಿಕ್ರಿಯೆಯಾಗಿ ಕನ್ನಡ ತತ್ವಪದಕಾರರು ಬಹುತ್ವವನ್ನು ತಮ್ಮ ಸಾಹಿತ್ಯದ ಆಶಯ ಹಾಗೂ ಬದುಕಿನ ಆಚರಣೆಯನ್ನಾಗಿ ಮಾಡಿಕೊಂಡರು. ಮೌಢ್ಯರಹಿತವಾದ ಸಮಸಮಾಜ ಕಲ್ಪನೆ ಅವರದಾಗಿತ್ತು. ತಮಗಿಂತಲೂ ಹಿಂದೆ ಹಲವು ಬಗೆಯ ಬಹುತ್ವದ ಮಾದರಿಗಳನ್ನು ಪ್ರತಿಪಾದಿಸಿದ್ದ ವಚನಕಾರರು ಇವರಿಗೆ ಆದರ್ಶವಾಗಿದ್ದರು ಎಂದು ತಿಳಿಸಿದರು.

ವಿಚಾರಸಂಕಿರಣದ ಭಾಗವಾಗಿ ಹೊರತರಲಾಗಿದ್ದ ‘ಕನ್ನಡ ತತ್ವಪದ ಸಾಹಿತ್ಯ

ಸಾಂಸ್ಕೃತಿಕ ಅನುಸಂಧಾನ-ಸಂಪುಟ 1 ಮತ್ತು 2’ ಕೃತಿಗಳನ್ನು ಲೋಕಾರ್ಪಣೆಗೊಳಿಸಲಾಯಿತು. ಪ್ರಸಿದ್ಧ ಗಾಯಕರಾದ ಶ್ರೀ ಖಾಸೀಂ ಮಲ್ಲಿಗೆ ಮಡುವು ತತ್ವಪದ ಗಾಯನವನ್ನು ಪ್ರಸ್ತುತಪಡಿಸಿದರು. ಪರ್ಯಾಯಗೋಷ್ಠಿಗಳಲ್ಲಿ 6೦ಕ್ಕೂ ಹೆಚ್ಚು ಸಂಶೋಧಕರು ಪ್ರಬಂಧ ಮಂಡನೆ ಮಾಡಿದರು.

ಕ್ರಿಸ್ತು ಜಯಂತಿ ವಿಶ್ವವಿದ್ಯಾಲಯದ ಮಾನವಿಕ ವಿಭಾಗದ ಡೀನರಾದ ಡಾ.ಗೋಪಕುಮಾರ್ ಎ.ವಿ. ಅವರು ಮುಖ್ಯ ಅತಿಥಿಯಾಗಿದ್ದರು. ಕನ್ನಡ ವಿಭಾಗದ ಮುಖ್ಯಸ್ಥರಾದ ಕ್ಯಾಪ್ಟನ್ ಡಾ.ಸರ್ವೇಶ್ ಬಿ.ಎಸ್. ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ವಿಚಾರಸಂಕಿರಣದ ಸಂಯೋಜಕರಾದ ಡಾ.ಕಿರಣಕುಮಾರ್ ಹೆಚ್.ಜಿ ಅವರು ವಂದಿಸಿದರು.

ಕನ್ನಡ ಪ್ರಾಧ್ಯಾಪಕರಾದ ಡಾ.ಕುಪ್ಪನಹಳ್ಳಿ ಎಂ.ಭೈರಪ್ಪ ಅವರು ನಿರೂಪಿಸಿದರು. ಕನ್ನಡ ಪ್ರಾಧ್ಯಾಪಕರಾದ ಪ್ರೊ.ಚಂದ್ರಶೇಖರ್ ಎನ್., ಡಾ.ಸೈಯದ್ ಮುಯಿನ್, ಡಾ.ರವಿಶಂಕರ್ ಎ.ಕೆ., ತತ್ವಪದಕಾರರ ಅಧ್ಯಯನ ಕೇಂದ್ರದ ಸಿಬ್ಬಂದಿವರ್ಗದವರಾದ ರಜತಾ ಶೆಟ್ಟಿ ಹಾಗೂ ಸುಪ್ರಿಯಾ ಅವರು ಉಪಸ್ಥಿತರಿದ್ದರು. 200ಕ್ಕೂ ಹೆಚ್ಚು ಅಧ್ಯಾಪಕರು, ಸಂಶೋಧಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂತರಂಗ

ಭೀಮಾ ಕೋರೆಗಾಂವ ; ಮಹರ್ ಸೈನಿಕರ ವೀರಗಾಥೆ

Published

on

~ ಡಾ. ಸುಜಾತಾ ಚಲವಾದಿ

ಭಾರತದ ಇತಿಹಾಸದಲ್ಲಿ ಅನೇಕ ಕ್ರೂರ ವ್ಯಂಗ್ಯಗಳಿವೆ. ಅವುಗಳಲ್ಲಿ ಪೇಶ್ವಾಶಾಹಿ ಆಡಳಿತವು ಒಂದು. ಅವರ ಆಡಳಿತ ಸಂದರ್ಭದಲ್ಲಿ ಅಸ್ಪೃಶ್ಯರು ತಮ್ಮ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಬದುಕುವ ಸ್ಥಿತಿಯಿತ್ತು. ಜಾತಿ ವ್ಯವಸ್ಥೆ ವಿಜೃಂಭಿಸುತ್ತಿದ್ದ ಕಾಲವದು.

ದೌರ್ಜನ್ಯ, ಅನ್ಯಾಯಕ್ಕೆ ಒಳಗಾಗಿ ಸದಾ ನೋವಿನ ಬದುಕು ಅಸ್ಪೃಶ್ಯರದ್ದಾಗಿತ್ತು. ಕಿತ್ತುತಿನ್ನುವ ಬಡತನ, ಹಸಿವು, ದಾರಿದ್ರö್ಯ, ಅಶಿಕ್ಷಿತರಾದ ಅಸ್ಪಶ್ಯರು ಅನ್ಯಾಯದ ವಿರುದ್ಧ ಹೋರಾಟ ಮಾಡುವುದು ಕನಸಿನ ಮಾತಾಗಿತ್ತು. ಇವರ ಬಲಹೀನತೆಯನ್ನು ಬಳಸಿಕೊಂಡು ‘ಪ್ರಾಣಿಗಿಂತ ಕೀಳಾಗಿ’ ನಡೆಸಿಕೊಳ್ಳುತ್ತಿದ್ದ ಪೇಶ್ವಾ ಆಡಳಿತವು ಶೂದ್ರರ, ನಿಮ್ನರ ಮೇಲೆ ತಮ್ಮ ಅಟ್ಟಹಾಸವನ್ನು ಮೆರೆಯುತ್ತಿದ್ದರು.

ಅನ್ಯಾಯಕ್ಕೆ ಒಳಗಾದ ಕೆಳಜಾತಿಯ ಮಹಾರರು, ಮಾಂಗರು, ಚಮ್ಮಾರರು ಮತ್ತು ಮಹಿಳೆಯರು ತತ್ತರಿಸಿ ಹೋಗಿದ್ದರು. ಮಹಾರಾಷ್ಟçದ ಪೇಶ್ವಾಶಾಹಿ ಕಾಲಘಟ್ಟದಲ್ಲಿ ನಡೆದ ಭೀಮಾ ಕೋರೆಗಾಂವ ಚಳವಳಿಯನ್ನು ಬರಹದ ರೂಪದಲ್ಲಿ ಬಾಬಾಸಾಹೇಬ ಅಂಬೇಡ್ಕರ್ ನಮ್ಮ ಮುಂದೆ ಇರಿಸಿದ್ದಾರೆ.
1ನೇ ಜನವರಿ 1818ರಲ್ಲಿ ಅಂದರೆ ಇಂದಿಗೆ 207 ವರ್ಷಗಳ ಹಿಂದೆ 28,000 ಸಾವಿರ ಸಂಖ್ಯೆಯ ಪೇಶ್ವಾಸೈನ್ಯದ ಎದುರು ಐದುನೂರು ಮಹಾರ ಜನಾಂಗದವರು ಹೋರಾಡಿ ವಿಜಯ ಸಾಧಿಸಿದ ದಿನ ಕೋರೆಗಾಂವ್ ಯುದ್ಧ ‘ನ್ಯಾಯದ ಯುದ್ಧ’, ಇಡೀ ಪರಿಶಿಷ್ಟ ಜಾತಿಯವರಿಗೆ ಸ್ವಾಭಿಮಾನದ ಸಂಕೇತವಾಗಿ ಪರಿಣಮಿಸಿದೆ.

ಈ ದಿನವನ್ನು ಯಾವ ಮಹಾರರೂ ಮರೆಯುವ ಹಾಗಿಲ್ಲ. ಬಾಬಾಸಾಹೇಬರು ಈ ದಿನದ ಸ್ಮರಣೆಯನ್ನು “ದಲಿತರ ಪರಾಕ್ರಮ ದಿನ”ವೆಂದು ತಿಳಿದು ಕೋರೆಗಾಂವನಲ್ಲಿ ನಿರ್ಮಿಸಿದ ವಿಜಯಸ್ತಂಭ ಸ್ಮಾರಕಕ್ಕೆ ವಂದಿಸಲು ಪ್ರತೀ ವರ್ಷ ಜನವರಿ 1 ರಂದು ತಪ್ಪದೇ ಹೋಗಿ ಬರುತ್ತಿದ್ದರು. ಜಾತಿಪದ್ಧತಿಯೇ ಪ್ರಧಾನವಾದ ಕಾಲದಲ್ಲಿ ಅಸ್ಪಶ್ಯರ ಸ್ಥಿತಿ ತುಂಬಾ ಹದಗೆಟ್ಟು ಹೋಗಿತ್ತು. ಮೇಲು-ಕೀಳು ಎಂಬ ಭಾವನೆ ಏರುಮುಖದಲ್ಲಿದ್ದ ಕಾಲ.

ಮನುಸ್ಮೃತಿಯನ್ನು ಚಾಚೂ ತಪ್ಪದೇ ಮುನ್ನಡೆಸಿಕೊಂಡು ಬರುವ ಮೇಲ್ವರ್ಗದವರು ಅಸ್ಪೃ್ಪಶ್ಯರನ್ನು ಕಂಡರೆ ಅನೇಕ ಬಗೆಯ ಶಿಕ್ಷೆಗೆ ಒಳಗು ಮಾಡುತ್ತಿದ್ದರು. ಅಸ್ಪೃಶ್ಯರನ್ನು ಕಂಡರೆ ಮೈಲಿಗೆಯಾಗುತ್ತದೆ ಎನ್ನುವ ಮನಸ್ಥಿತಿ ಅವರದ್ದು, ಅಸ್ಪೃಶ್ಯ ರಸ್ತೆಗೆ ಇಳಿಯಕೂಡದು, ಒಳ್ಳೆ ಬಟ್ಟೆ ಹಾಕಿಕೊಳ್ಳುವ ಹಾಗಿಲ್ಲ, ಒಳ್ಳೆಯ ಆಹಾರ ಸೇವನೆಯಂತೂ ಕನಸಿನ ಮಾತಾಗಿತ್ತು. ಊರ ಪ್ರವೇಶಕ್ಕೆ ಸಮಯ ನಿಗದಿ ಮಾಡಿದ್ದರು.

ಸೂರ್ಯೋದಯ, ಸೂರ್ಯಾಸ್ತದ ಸಂದರ್ಭದಲ್ಲಿ ಅಸ್ಪೃಶ್ಯ ವ್ಯಕ್ತಿ ಊರಲ್ಲಿ ಬರುವಂತಿರಲಿಲ್ಲ. ಸೂರ್ಯ ನೆತ್ತಿಯ ಮೇಲಿದ್ದಾಗ ಮಾತ್ರ ಊರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಬೀದಿಯಲ್ಲಿ ಹೋಗಬೇಕಾದರೆ ಕೊರಳಿಗೆ ಮಣ್ಣಿನ ಸಣ್ಣ ಕುಡಿಕೆಯನ್ನು ಹಾಕಿಕೊಂಡು ಹೋಗಬೇಕು, ಉಗುಳುವ ಸಂದರ್ಭ ಬಂದರೆ, ಅದೇ ಕುಡಿಕೆಯಲ್ಲಿಯೇ ಉಗುಳಿಕೊಳ್ಳಬೇಕು. ಕಾರಣ ರಸ್ತೆಯಲ್ಲಿ ಅಸ್ಪೃಶ್ಯರು ಉಗುಳಿದರೆ ಅವನ ಹೇಸಿಗೆಯನ್ನು ಸವರ್ಣೀಯರು ತುಳಿಯಬಾರದು.

ತುಳಿದರೆ ಮೈಲಿಗೆಯಾಗುತ್ತಿತ್ತು. ರಸ್ತೆಯಲ್ಲಿ ನಡೆಯುವಾಗ ಆತನ ನೆರಳು ಅವನ ಕಾಲಲ್ಲಿಯೇ ಉಳಿಯುವ ಹಾಗೇ ಮಧ್ಯಾಹ್ನದ ನೆತ್ತಿ ಸುಡುವ ಬಿಸಿಲಿನಲ್ಲಿ ಮಾತ್ರ ಊರಲ್ಲಿ ಬರಬೇಕು. ನಡೆದುಕೊಂಡು ಹೋಗುವಾಗ ಹೆಜ್ಜೆ ಗುರುತುಗಳು ಕಾಣದಿರಲಿ ಎಂದು ಬೆನ್ನಿಗೆ ಮುಳ್ಳಿನ ಪೊರಕೆಯನ್ನು ಕಟ್ಟಿಕೊಂಡು ಸಾಗಬೇಕಾದ ಸ್ಥಿತಿ ಅವರದಾಗಿತ್ತು. ಹಾಗೇ ಅಸ್ಪೃಶ್ಯನೊಬ್ಬ ಬರುವುದನ್ನು ‘ಸಂಭೋಳಿ ಸಂಭೋಳಿ ಮಾಯ್ ಬಾಪ್ ಹೊಲೆಯ ಬರುತ್ತಿದ್ದೇನೆ’ ಅಂತಾ ಕೂಗಿ ಹೇಳಬೇಕು. ಇಲ್ಲ, ಕೈಯಲ್ಲಿ ಗೆಜ್ಜೆಕಟ್ಟಿದ ಕೋಲನ್ನು ಹಿಡಿದುಕೊಂಡು ನೆಲಕ್ಕೆ ಕುಕ್ಕಿಸಿಕೊಂಡು ಸದ್ದು ಮಾಡುತ್ತ ಹೋಗಬೇಕು.

ಇದಲ್ಲದೆ ಅಸ್ಪೃಶ್ಯ ಊರ ಪ್ರವೇಶ ಮಾಡಿದಾಗ ಯಾರಾದರೂ ಎದುರು ಬಂದರೆ ಸುಡುವ ಬಿಸಿಲಲ್ಲಿ ಓಡಿ ಹೋಗಿ ಭೂಮಿಯನ್ನು ಅಪ್ಪಿಕೊಳ್ಳಬೇಕು. ಸವರ್ಣೀಯರಿಗೆ ಅವನ ನೆರಳೂ ಸ್ಪರ್ಶ ಮಾಡುವಂಗಿರಲಿಲ್ಲ. ಇಂತಹ ಅಮಾನವೀಯ ನಿಯಮಗಳನ್ನು ಹೊರಡಿಸಿದ ಕಾಲಘಟ್ಟವದು. ಇಷ್ಟೆಲ್ಲಾ ನಿಯಮಗಳನ್ನು ಅಸ್ಪಶ್ಯರ ಮೇಲೆ ಹೇರಿದರೂ ಕೂಡಾ ಮಹಾರ್ ಸೈನಿಕರು ತಮ್ಮ ಪ್ರಾಣವನ್ನು ಲೆಕ್ಕಿಸದೆ ಮೊಗಲರ ಬೃಹತ್ ಸೈನ್ಯದ ವಿರುದ್ಧ ಹೋರಾಡಿ ಪೇಶ್ವೆಗಳ ಪರವಾಗಿ ಯುದ್ಧಕ್ಕೆ ಸನ್ನದ್ಧರಾಗಿದ್ದರು. ಮಹಾರ್ ಸೈನಿಕರ ಶೌರ್ಯದಿಂದಲೇ ಪೇಶ್ವೆಗಳ ಆಡಳಿತ ಸುಗಮವಾಗಿ ನಡೆಯುತ್ತಿತ್ತು. ಆದರೆ ಪೇಶ್ವಗಳು ಮತ್ತು ಸವರ್ಣೀಯರು ಮಹಾರ್‌ಸೈನಿಕರನ್ನು ತುಚ್ಛವಾಗಿ ನಡೆಸಿಕೊಳ್ಳುತ್ತಿದ್ದರು.

1758 ರಲ್ಲಿ ಬ್ರಿಟಿಷರು ಈಸ್ಟ್ ಇಂಡಿಯಾ ಕಂಪನಿಯನ್ನು ಸ್ಥಾಪಿಸಿದ ನಂತರ ಮಹಾರ್ ಜನರನ್ನು ಸೈನಿಕರಾಗಿ ನೇಮಕ ಮಾಡಿಕೊಳ್ಳಲು ಪ್ರಾರಂಭಿಸಿದರು. ಭಾರತೀಯ ಮಹಾರ್ ಸೈನಿಕರಿಗೆ ಶಿಕ್ಷಣದ ಅವಕಾಶವನ್ನು ಮಾಡಿಕೊಟ್ಟಿದ್ದರ ಪರಿಣಾಮ ಸ್ವಲ್ಪ ಮಟ್ಟಿಗೆ ತಿಳಿವಳಿಕೆ ಮೂಡಲು ಸಹಾಯವಾಯಿತು. ತಮ್ಮ ಹಕ್ಕು-ಬಾಧ್ಯತೆಗಳನ್ನು ತಿಳಿಯುವಂತಾಯಿತು. ಬ್ರಿಟಿಷರಲ್ಲಿ ಇರದ ಜಾತಿವ್ಯವಸ್ಥೆ ನಮ್ಮ ದೇಶದಲ್ಲಿ ಕಂಡ ಮಹಾರ್ ಸೈನಿಕರು ಬ್ರಿಟಿಷರಿಗೆ ತಮ್ಮ ಬೆಂಬಲವನ್ನು ನೀಡುವಂತಾಯಿತು. ಅವಮಾನ, ಅನ್ಯಾಯ, ದೌರ್ಜನ್ಯಕ್ಕೆ ಒಳಗಾದ ಮಹಾರ್ ಜನಾಂಗದವರು, ಈ ಎಲ್ಲದರಿಂದ ಮುಕ್ತಿ ಕಾಣಲು ಬ್ರಿಟಿಷರ ಪರವಾಗಿ ಯುದ್ಧಗಳಲ್ಲಿ ಹೋರಾಡಲು ಪ್ರಾರಂಭಿಸಿದರು.

ಎರಡನೆಯ ಬಾಜೀರಾವ್ ಪೇಶ್ವೆಯ ರಾಜ್ಯಾಡಳಿತವಿದ್ದ ಸಂದರ್ಭದಲ್ಲಿ 31 ನೇ ಡಿಸೆಂಬರ್ 1817 ರ ರಾತ್ರಿ ಬ್ರಿಟಿಷರ ಸೇನಾಪತಿ ಕ್ಯಾಪ್ಟನ್ ಫ್ರಾನ್ಸಿಸ್ ಸ್ಟಂಡನ್ ಮುಂದಾಳತ್ವದಲ್ಲಿ ಸೇನೆ ಪೇಶ್ವೆಗಳ ಮೇಲೆ ದಾಳಿ ಮಾಡಲು ಸಿದ್ಧಗೊಂಡಿತು. ಇದನ್ನು ತಿಳಿದ ಮಹಾರ್ ಬೆಟಾಲಿಯನ್ನಿನ ನಾಯಕ ಸಿದ್ಧನಾಕ ಮಾರುವೇಷದಲ್ಲಿ ಪೇಶ್ವೆಯನ್ನು ಕಾಣುತ್ತಾನೆ. ಆಗ ಪೇಶ್ವೆ ಮಹಾರ್ ಬೆಟಾಲಿಯನ್ನಿನ ನಾಯಕ ಸಿದ್ಧನಾಕನನ್ನು ಒಳಗೆ ಬಿಟ್ಟವನನ್ನು ಕೊಲ್ಲಿಸುತ್ತಾನೆ. ಇಂಗ್ಲಿಷರು ನಿಮ್ಮ ಮೇಲೆ ಯುದ್ಧ ಮಾಡುವರಿದ್ದಾರೆ, ನೀವು ನಮ್ಮ ಹಕ್ಕುಗಳನ್ನು ನಮಗೆ ನೀಡುವುದಾದರೆ ನಿಮ್ಮ ಪರವಾಗಿ ಅವರ ವಿರುದ್ಧ ನಾವು ಹೋರಾಡುತ್ತೇವೆ ಎನ್ನುತ್ತಾನೆ. “ನಿಮ್ಮ ಹಕ್ಕುಗಳು ಯಾವವು? ನೀನು ಇನ್ನೊಂದು ಘಳಿಗೆ ಇಲ್ಲಿ ನಿಂತರೆ ನಿನ್ನ ಶಿರಚ್ಛೇದನ ಮಾಡುತ್ತೇನೆ” ಎಂದು ಗದರುತ್ತಾನೆ. ಸಿದ್ಧನಾಕ ಮರಳಿ ಬಂದು ಅಲ್ಲಿ ನಡೆದ ಎಲ್ಲ ವಿವರ ಸಂಗಾತಿಗಳಿಗೆ ನೀಡುತ್ತಾನೆ. ಅಂತಿಮವಾಗಿ ಇಂಗ್ಲಿಷರ ಪರವಾಗಿ ಮಹಾರ್ ಬೆಟಾಲಿಯನ್ ಹೋರಾಡಲು ಸಿದ್ಧವಾಗುತ್ತದೆ. ಪೇಶ್ವೆಗಳ ಸೈನ್ಯ ಕೋರೆಗಾಂವ್ ಪ್ರದೇಶದ ಭೀಮಾನದಿಯ ಬಲದಂಡೆಯ ಮೇಲೆ ಯುದ್ಧಕ್ಕೆ ಸಜ್ಜಾಗಿ ಸುತ್ತುವರೆದು ನಿಂತುಕೊಂಡಿತು. ಮಹಾರ್ ರೆಜಿಮೆಂಟ್ ಸೈನ್ಯ ಬ್ರಿಟಿಷರ ಪರವಾಗಿ ಯುದ್ಧಕ್ಕೆ ಸಜ್ಜಾಗಿದ್ದರು.

ಪೇಶ್ವೆಗಳ ಸೇನೆಯು 25,000 ಕುದುರೆ ಸವಾರರು ಮತ್ತು 3,000 ಕ್ಕಿಂತಲೂ ಹೆಚ್ಚು ಸಂಖ್ಯೆಯಲ್ಲಿದ್ದ ಯೋಧರಿಂದ ತುಂಬಿ ತುಳುಕುತ್ತಿತ್ತು. ಎರಡೂ ಸೇನೆಗಳ ನಡುವೆ ಘನಘೋರ ಯುದ್ಧ ಪ್ರಾರಂಭವಾಗುತ್ತದೆ. ಬೃಹತ್ ಸೇನೆಯ ವಿರುದ್ಧ ಬ್ರಿಟಿಷ್ ಸೇನಾಪತಿ ಕ್ಯಾಪ್ಟನ್ ಪ್ರಾನ್ಸಿಸ್ ಸ್ಟಂಡನ್ ತಾನು ಸೋಲುತ್ತೇನೆ ಎಂದುಕೊAಡು ನಿರಾಶೆಯನ್ನು ತಳೆದಿದ್ದ. ಆದರೂ ಎದುರಾಳಿಯ ಜೊತೆ ಯುದ್ಧದಲ್ಲಿ ಮುನ್ನುಗ್ಗುವುದು ಆತನ ವಿಚಾರವಾಗಿತ್ತು. “ಮಹಾರ್ ಸೈನಿಕರು ವೀರಾವೇಶದಿಂದ ಹೋರಾಡಿ ಪೇಶ್ವೆಗಳು ಪಲಾಯನ ಗೈಯ್ಯಲು ಕಾರಣರಾದರು. ಈ ಯುದ್ಧದಲ್ಲಿ ಎರಡನೆಯ ಬಾಜಿರಾವ್ ಪೇಶ್ವೆಯು ಪಲಾಯನ ಮಾಡುವುದರಲ್ಲಿ ಮೊದಲಿಗ”ನೆಂದು ಬಾಬಾಸಾಹೇಬರು ತಮ್ಮ ಬರಹದಲ್ಲಿ ದಾಖಲಿಸಿದ್ದಾರೆ.

ಬೆಳಿಗ್ಗೆ ಆರು ಗಂಟೆಗೆ ಪ್ರಾರಂಭವಾದ ಯುದ್ಧ ರಾತ್ರಿ ಆರು ಗಂಟೆಗೆ ಮುಕ್ತಾಯಗೊಳ್ಳುತ್ತದೆ. ಸಂಖ್ಯೆಯಲ್ಲಿ ಅಲ್ಪವಾಗಿದ್ದರೂ ಅತ್ಯಂತ ಕೆಚ್ಚಿನಿಂದ ಕಲಿತನ ಪ್ರದರ್ಶಿಸಿದ ಮಹಾರ್ ಯೋಧರು, ತಮ್ಮ ಮೇಲೆ ಅಮಾನವೀಯವಾದ ಅಸ್ಪೃಶ್ಯತೆಯನ್ನು ಹೇರಿದ್ದ ಪೇಶ್ವೆ ಆಡಳಿತವನ್ನು ಯುದ್ಧದಲ್ಲಿ ಮಣ್ಣು ಮುಕ್ಕಿಸಿದರು. ಮಹಾರ್ ಸೈನಿಕರ ಅಭೂತಪೂರ್ವ ಕಲಿತನದ ಕಾರಣದಿಂದಲೇ ಬ್ರಿಟಿಷರು ಕೋರೆಗಾಂವ್ ಯುದ್ಧವನ್ನು ಗೆಲ್ಲಲು ಸಾಧ್ಯವಾಯಿತು. ಗೆಲುವಿಗೆ ಕಾರಣರಾದ, ಕದನದಲ್ಲಿ ಹುತಾತ್ಮರಾದ ಯೋಧರನ್ನು ಸದಾಕಾಲ ಸ್ಮರಿಸುವಂತೆ ಕೋರೆಗಾಂವನ ಭೀಮಾನದಿ ತೀರದ ಪ್ರಶಸ್ತವಾದ ಮೈದಾನ, ಕದನದ ಕಿಡಿ ಮೊಟ್ಟ ಮೊದಲು ಹೊತ್ತಿದ ಸ್ಥಳದಲ್ಲಿ ಬ್ರಿಟಿಷರು ಸ್ಮರಣ ಸ್ತಂಭವನ್ನು ಸ್ಥಾಪಿಸಿದರು.

26 ನೆಯ ಮಾರ್ಚ್ 1821 ರಲ್ಲಿ ಈ ಭವ್ಯ ವಿಜಯಸ್ತಂಭಕ್ಕೆ ಅಡಿಗಲ್ಲು ಹಾಕಿದಾಗ ಬಂದೂಕು ಮತ್ತು ತೋಪುಗಳ ಮೂಲಕ ಹುತಾತ್ಮರಿಗೆ ರಾಜಮರ್ಯಾದೆಯ ಶ್ರದ್ಧಾಂಜಲಿ ಸಲ್ಲಿಸಲಾಯಿತು. 63 ಅಡಿ ಎತ್ತರ ಇರುವ ಈ ವಿಜಯಸ್ತಂಭವು 1822 ರಲ್ಲಿ ಪೂರ್ಣವಾಗಿ ನಿರ್ಮಾಣವಾಯಿತು. ಮೊದಲಿಗೆ ಈ ಸ್ತಂಭವನ್ನು ಮಹಾರ್ ಸ್ತಂಭವೆAದು ಕರೆಯಲಾಗುತ್ತಿತ್ತು. ನಂತರದಲ್ಲಿ ವಿಜಯಸ್ತಂಭವೆಂದು ಹೆಸರಿಸಲಾಯಿತು.

ವಿಜಯಸ್ತಂಭದ ಮೇಲೆ 20 ಮಹಾರ್ ಸೈನಿಕರ ಹೆಸರುಗಳನ್ನು ಕೆತ್ತಿಸಲಾಗಿದೆ. ಪ್ರತಿವರ್ಷ ಜನೆವರಿ 1 ರಂದು ಬಾಬಾಸಾಹೇಬರು ಕೋರೆಗಾಂವ್ ವಿಜಯಸ್ತಂಭಕ್ಕೆ ಭೇಟಿ ಕೊಟ್ಟು ನಮನವನ್ನು ಸಲ್ಲಿಸುತ್ತಿದ್ದರು. ಇಂತಹ ಐತಿಹಾಸಿಕ ವಿಜಯದ ಸಂಕೇತವಾದ ಕೋರೆಗಾಂವ ಚಳವಳಿಯನ್ನು ಮತ್ತೆ ಮತ್ತೆ ನೆನೆಯುವುದು ಇಂದಿನ ಅನಿವಾರ್ಯವೂ ಹೌದು. ಏಕೆಂದರೆ ಬಾಬಾಸಾಹೇಬರೇ ಹೇಳಿದ ಹಾಗೆ “ಇತಿಹಾಸವನ್ನು ತಿಳಿಯದವನು ಇತಿಹಾಸವನ್ನು ಸೃಷ್ಟಿಸಲು ಸಾಧ್ಯವಾಗದು” ಎಂದಿದ್ದಲ್ಲದೆ ದಲಿತರಾರೂ ಕುರಿಗಳಲ್ಲ, ಅವರು ಹುಲಿಗಳು’ ಎಂದು ಹೇಳಿರುವುದನ್ನು ಮತ್ತೆ ಮತ್ತೆ ಮನನಿಸಬೇಕಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂತರಂಗ

ಕುವೆಂಪು ಅವರಿಗೆ ಲಂಕೇಶರ ಎಂಟು ಪ್ರಶ್ನೆಗಳು

Published

on

ಕುವೆಂಪು ಅವರನ್ನು ನಾನು ಅಂದು ನೋಡಿದ್ದು ಎರಡನೆ ಸಲ. ನಾನು ನೋಡಲು ಬಂದಿರುವ ವಿಷಯ ತಿಳಿದು ಕೈಯಲ್ಲಿ ನನ್ನ ಪ್ರಶ್ನೆ ಮತ್ತು ತಮ್ಮ ಉತ್ತರಗಳಿಂದ ಕೂಡಿದ ಟೈಪ್ ಮಾಡಿದ ಹಾಳೆಗಳನ್ನು ಹಿಡಿದುಕೊಂಡು ಬಂದರು. ನಾನು ಮತ್ತು ಮಿತ್ರ ನೆಲಮನೆ ದೇವೇಗೌಡರು ನಮಸ್ಕರಿಸಿದೊಡನೆ ಕೂತು ಪ್ರಶ್ನೆ ಮತ್ತು ಉತ್ತರಗಳನ್ನು ಓದುತ್ತ ವಿವರಿಸತೊಡಗಿದರು.

ತಮಗೆ ಯಾವುದೇ ಜಾತಿಯ ಬಗ್ಗೆ ಒಣ ಅಭಿಮಾನವಾಗಲಿ ಅನಗತ್ಯ ಪೂರ್ವಗ್ರಹವಾಗಲಿ ಇಲ್ಲವೆಂದು ಸ್ಪಷ್ಟಪಡಿಸಿದರು. ಅವರ ಮಾತಿನಲ್ಲಿ ತಮ್ಮ ಉತ್ತರಗಳು ಜನಕ್ಕೆಲ್ಲಿ ತಿಳಿಯುವುದಿಲ್ಲವೋ ಎಂಬ ಆತಂಕವಿದ್ದಂತಿತ್ತು. ಆದ್ದರಿಂದ ತಮ್ಮ ಕೃತಿಗಳಿಂದ ಉದಾಹರಣೆ ಎತ್ತಿಕೊಂಡು ಮಾತಾಡಿದರು. ನಾನು ಅವೆಲ್ಲವನ್ನೂ ಓದಿದ್ದೆನಾದ್ದರಿಂದ ಆ ವಿವರಣೆ ಅನಗತ್ಯವಾಗಿತ್ತು. ಆದರೆ ಕುವೆಂಪು ಅವರಿಗೆ ಅದಮ್ಯ ಉತ್ಸಾಹವಿದೆ; ಈ ಸಮಾಜದ ಕೆಡಕುಗಳ ಬಗ್ಗೆ ಕೋಪವಿದೆ. ತಾವು ಎಷ್ಟೇ ಬರೆದರೂ ಮಾತಾಡಿದರೂ ಈ ಜನತೆ ಸರಿಹೋಗುತ್ತದೋ ಇಲ್ಲವೋ ಎಂಬ ಸಂದೇಹವಿದೆ. ಆದ್ದರಿಂದಲೇ ಹಲವೊಮ್ಮೆ ವ್ಯಗ್ರವಾಗಿ ಮಾತಾಡುತ್ತಾರೆ. ಅವರು ನನ್ನ ಪ್ರಶ್ನೆಗಳಿಗೆ ಉತ್ತರ ಹೇಳುತ್ತ ಹೊಸ ಸಾಹಿತ್ಯದ ಬಗ್ಗೆ ಮಾತಾಡಿರುವುದನ್ನೂ ಈ ಅರ್ಥದಲ್ಲೇ ತೆಗೆದುಕೊಳ್ಳಬೇಕೆಂದು ಕಾಣುತ್ತದೆ.

ಕಿರಿಯ ಲೇಖಕರು ಯಾರಿಗೂ ಅರ್ಥವಾಗದ ಗೊಂದಲಗಳಲ್ಲಿ ಸಿಲುಕಿಕೊಂಡು ತಮ್ಮನ್ನು ತಾವು ಮೋಸಗೊಳಿಸಿಕೊಳ್ಳುವ ಬದಲು ಸಮಾಜಕ್ಕೆ ತಮ್ಮನ್ನು ತಾವು ತೆರೆದುಕೊಳ್ಳಬೇಕೆಂದೂ ಸಮಾಜದ ಅನಿಷ್ಟಗಳನ್ನು ಸರಿಪಡಿಸಬೇಕೆಂದೂ ಅವರು ಸೂಚಿಸುತ್ತಾರೆ. ಇದು ಕಿರಿಯ ಬರಹಗಾರರು ಅನುಭವ ಪಡೆಯುವ ಬಗ್ಗೆ ಉತ್ತಮ ಹಿತವಚನ. ಇನ್ನೊಂದು ಬಗೆಯಲ್ಲಿ ಇದು ನೀತಿ ಪಾಠ. ಇವೆರಡೂ ಕುವೆಂಪು ಮಾತುಗಳಲ್ಲಿರುವುದು ಎಂಥವರಿಗೂ ಕಂಡು ಬರುತ್ತದೆ.

ಆವೊತ್ತು ಮಾತಾಡುವ ಮೂಡಲ್ಲಿದ್ದರು ಕುವೆಂಪು ನಾವಿಬ್ಬರೂ ಕೆಲಸದ ಮೂಡಿನಲ್ಲಿದ್ದೆವು. ಅವರು ತಮ್ಮ ‘ರಾಮಾಯಣ ದರ್ಶನಂ’ನಿಂದ ಓದಿ ತೋರಿಸುವುದಾಗಿ ಸೂಚಿಸಿ ಬೇರೊಂದು ವಿಷಯ ಎತ್ತಿಕೊಂಡು ವಿವರಿಸತೊಡಗಿದರು. ‘ಪಾಂಚಾಲಿ’ ವಿವಿಧ ತೊಡಕುಗಳಲ್ಲಿ ಸಿಲುಕಿದ್ದ ನಾನು ಮತ್ತು ದೇವೇಗೌಡರು ನಮಸ್ಕಾರ ಹೇಳಿ ಹೊರಬಿದ್ದೆವು.

ಕುವೆಂಪು ಒಂದು ಸಂಸ್ಥೆ ಅಥವಾ ದೇವತೆಯಾಗಿ ಹುಂಬರ ಮನಸ್ಸಿನಲ್ಲಿ ಬೆಳೆಯುತ್ತಿದ್ದ ವೇಳೆಗೆ ಸರಿಯಾಗಿ ಅವರು ಮೈಕೊಡವಿಕೊಂಡು ಹೊರಬಂದು ಮನುಷ್ಯರೂ ವಿಚಾರವಾದಿಗಳೂ ಆಗಿ ಮಾತಾಡುತ್ತಿದ್ದುದು ನನಗೆ ಸಂತಸ ಉಂಟುಮಾಡಿತ್ತು.

——————————————————————-

ಲಂಕೇಶ್: ಸಾಮಾನ್ಯವಾಗಿ ಸಾರ್ವಜನಿಕ ಸಭೆಗಳಲ್ಲಿ ಮತ್ತು ವಾದವಿವಾದಗಳಲ್ಲಿ ಭಾಗವಹಿಸದ ತಾವು ಈಚೆಗೆ ಹೀಗೆ ಭಾಗವಹಿಸುವ ಮೂಲಕ ತಮ್ಮ ವಿಶಿಷ್ಟ ಬಗೆಯ ಕೀರ್ತಿಗೆ ಕಳಂಕ ತಂದುಕೊಳ್ಳುತ್ತಿರಬಹುದೇ ಎಂಬ ಅಳುಕು ತಮ್ಮ ಅಭಿಮಾನಿಗಳಲ್ಲಿ ಕೆಲವರಿಗಿದೆ. ಈ ಬಗ್ಗೆ ತಮ್ಮ ಅಭಿಪ್ರಾಯವೇನು?

ಕುವೆಂಪು: ಕೀರ್ತಿಗಿಂತಲೂ ನನಗೆ ಹೆಚ್ಚು ಪ್ರಿಯವಾದದ್ದು ಸತ್ಯ. ಸತ್ಯ ಹೇಳಿದರೆ ಕಲುಷಿತವಾಗುವ ಕೀರ್ತಿ ಭ್ರಷ್ಟಾಚಾರದ ವಸ್ತುವಾಗುತ್ತದೆ. ಅಲ್ಲದೆ ‘ಕೀರ್ತಿಶನಿ’ ಎಂಬ ನನ್ನ ಸಾನೆಟ್ಟಿನಲ್ಲಿ ಅನೇಕ ವರ್ಷಗಳ ಹಿಂದೆಯೇ ನಾನು ಅದನ್ನು ‘ತೊಲಗಾಚೆ’ ಎಂದು ತೊಲಗಿಸಿದ್ದೇನೆ. ಆದರೂ, ಶ್ರೀ ಎ.ಆರ್. ಕೃಷ್ಣಶಾಸ್ತ್ರಿಗಳು ಹೇಳಿದಂತೆ, ಶನಿ ಒಮ್ಮೆ ಬೆನ್ನು ಹತ್ತಿದರೆ ಬಿಡುವುದಿಲ್ಲವಂತೆ. ನನ್ನ ಮತ್ತೊಂದು ಸಾನೆಟ್ ‘ಯಶೋಲಕ್ಷ್ಮಿ’ ಈ ವಿಚಾರವಾಗಿ ನನ್ನ ಭಾವನೆ ಏನು ಎಂಬುದನ್ನು ತಿಳಿಸುತ್ತದೆ. ಕೀರ್ತಿ ಕಲುಷಿತವಾಗುವುದಿರಲಿ ಅಪಕೀರ್ತಿಯೆ ಬಂದರು ಸತ್ಯ ಹೇಳುವುದನ್ನು ಬಿಡುವುದಿಲ್ಲ.

ಲಂಕೇಶ್: ಕೆಟ್ಟಿರಲಿ, ಕೆಡದಿರಲಿ ಭಾರತೀಯ ಸಂಸ್ಕೃತಿಯೆಂದರೆ ವೈದಿಕ ಸಂಸ್ಕೃತಿಯೇ ಎಂಬ ಅಭಿಪ್ರಾಯದ ಬಗ್ಗೆ ನಿಮಗೇನೆನ್ನಿಸುತ್ತದೆ?

ಕುವೆಂಪು: ಇದೊಂದು ತಪ್ಪು ಅಭಿಪ್ರಾಯ. ಭಾರತೀಯ ಸಂಸ್ಕೃತಿ ಬರಿಯ ವೈದಿಕವಲ್ಲ. ಅವೈದಿಕವೂ ಅದರ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿದೆ. ಬೌದ್ಧ, ಜೈನಗಳಲ್ಲದೆ ನ್ಯಾಯ, ವೈಶ್ಲೇಷಿಕ, ಸಾಂಖ್ಯ, ಯೋಗ ದರ್ಶನಗಳೂ ವೇದದ ಪರಮ ಪ್ರಾಮಾಣ್ಯವನ್ನು ಅವಿಚಾರಕವಾಗಿ ಒಪ್ಪಬೇಕು ಅನ್ನುವುದಿಲ್ಲ. ನನ್ನದು ವಿಶ್ವಸಂಸ್ಕೃತಿ. ಅಭಾರತೀಯವೂ ಅದರಲ್ಲಿ ಸೇರಿದೆ. ಸನಾತನವೂ (ಪುರಾತನ ಅಲ್ಲ.) ಶಾಶ್ವತವೂ ಆಧ್ಯಾತ್ಮಿಕವೂ ವಿಚಾರ ಮತ್ತು ವಿಜ್ಞಾನಗಳಿಗೆ ಅವಿರುದ್ಧವೂ ಆಗಿರುವ ಸತ್ಯ ಎಲ್ಲಿಯೇ ಇರಲಿ ಅದನ್ನು ನಾನು ಸ್ವೀಕರಿಸಿದ್ದೇನೆ.

ಲಂಕೇಶ್: ಬ್ರಾಹ್ಮಣ ಜಾತಿಯಲ್ಲಿ ಹಲವು ಒಳಪಂಗಡಗಳಿದ್ದರೂ ಕೇವಲ ಒಂದು ಪಂಗಡವನ್ನು ನೀವು ಟೀಕಿಸಿದ್ದು ಕೇವಲ ಉದಾಹರಣೆಗೋ ಅಥವಾ ಆ ಪಂಗಡ ತೀರಾ ಮಲಿನಗೊಂಡಿದೆ ಎಂಬ ಕಾರಣಕ್ಕೋ?

ಕುವೆಂಪು: ನನ್ನ ಭಾಷಣ ಬ್ರಾಹ್ಮಣರಿಗಾಗಲಿ, ಮಾಧ್ವರಿಗಾಗಲೀ ನಿರ್ದೆಶಿಸಿದ್ದಲ್ಲ; ಒಕ್ಕೂಟದವರಿಗಾಗಿ ಮಾತ್ರ. ಜಗತ್ತಿನ ಪುರೋಹಿತಶಾಹಿ ಅವೈಚಾರಿಕ ಮತ್ತು ಅವೈಜ್ಞಾನಿಕ ಮೂಢ ಭಾವನೆಗಳ ಆಶ್ರಯದಲ್ಲಿ ಶ್ರೀ ಸಾಮಾನ್ಯರನ್ನು ಹೇಗೆ ವಂಚಿಸುತ್ತಾ ಬಂದಿದೆ ಎನ್ನುವುದನ್ನು ಕುರಿತು ವಿಚಾರವಾದಿಗಳಾಗಿ ಬಾಳನ್ನು ನಡೆಸಬೇಕು ಎನ್ನುವ ತರುಣರಿಗೆ ತಿಳಿಸುತ್ತಿದ್ದೆ. ಪ್ರಾಸಂಗಿಕವಾಗಿ, ನಾನು ಕೆಲವೇ ದಿನಗಳ ಹಿಂದೆ ಆ ಪುಸ್ತಕಗಳನ್ನು ಓದುತ್ತಿದ್ದು ಸಂಗತಿ ಮನಸ್ಸಿನಲ್ಲಿ ಹೊಚ್ಚ ಹೊಸದಾಗಿ ಇದ್ದುದರಿಂದ ಮಧ್ವ-ಜಯತೀರ್ಥರ ನಿದರ್ಶನಗಳನ್ನು ಕೊಟ್ಟೆನಷ್ಟೆ; ಆಮೇಲೆ ಗುಲ್ಲೆದ್ದ ಮತಭ್ರಾಂತರ ಗಲಾಟೆಯಿಂದಲೇ ಗೊತ್ತಾದದ್ದು ನಾನು ಎಂತಹ ಹೇಸಿಗೆಯ ಹೊಂಡಕ್ಕೆ ಕಲ್ಲು ಎಸೆದಿದ್ದೇನೆ ಎಂದು.

ಲಂಕೇಶ್: ತಮ್ಮ ಕಾವ್ಯದ ಮತ್ತು ಮುಖ್ಯ ಕಥಾಸಾಹಿತ್ಯದ (fiction) ಕೇಂದ್ರ ನಿಲುವು ವೈದಿಕ, ಆದರ್ಶಮಯ, ಅವಾಸ್ತವ ಎಂದು ಹಲವರು ಟೀಕಿಸುತ್ತಾರೆ. ಇದಕ್ಕೆ ತಮ್ಮ ಉತ್ತರವೇನು?

ಕುವೆಂಪು: ಅವರ ತಲೆ; ನನ್ನದು ವಿಶ್ವಪ್ರಜ್ಞೆ. ನಾನು ಭಾರತೀಯನಾಗಿ ಅದರಲ್ಲೂ ಕನ್ನಡಿಗನಾಗಿ ಹುಟ್ಟಿದ್ದರಿಂದ ಆ ಸಂಸ್ಕೃತಿಯ ಮತ್ತು ಆ ಭಾಷೆಯ ಪರಿಭಾಷೆಯನ್ನು ಅನಿವಾರ್ಯವಾಗಿ ಉಪಯೋಗಿಸುತ್ತೇನಷ್ಟೆ. ಸತ್ಯ ವೈದಿಕವಾಗಿ ಪ್ರಕಟವಾದ ಮಾತ್ರಕ್ಕೆ ಅಸತ್ಯವಾಗುವುದಿಲ್ಲ. ಆದರ್ಶಮಯವಾದ ಮಾತ್ರಕ್ಕೆ ಅವಾಸ್ತವವಾಗುವುದಿಲ್ಲ. ನನ್ನ ಭಾಷಣದ ಉದ್ದೇಶವೆ ಒಕ್ಕೂಟದ ಹುಡುಗರನ್ನು ಅಂತಹ ತಪ್ಪುದಾರಿಗೆ ಹೋಗದಿರುವಂತೆ ತಡೆಯಬೇಕು ಎಂಬುದಾಗಿತ್ತು. ಚಿನ್ನದ ಒಡವೆಯನ್ನು ಅಕ್ಕಸಾಲಿ ಮಾಡಿದ ಮಾತ್ರಕ್ಕೆ ಚಿನ್ನ ಅಸತ್ಯವಾಗುತ್ತದೆಯೇ? ಗ್ರಾವಿಟೇಶನ್ ಸಿದ್ಧಾಂತವನ್ನು ನ್ಯೂಟನ್ ಕಂಡುಹಿಡಿದ ಮಾತ್ರಕ್ಕೆ ಅದು ಕ್ರೈಸ್ತವಾಗುತ್ತದೆಯೇ? ವೇದದ ಋಷಿ ಸನಾತನ ಶಾಶ್ವತ ಸತ್ಯವನ್ನು ಸಾಕ್ಷಾತ್ಕರಿಸಿಕೊಂಡು ಅದಕ್ಕೆ ‘ಬ್ರಹ್ಮನ್’ ಎಂದು ಹೆಸರು ಕೊಟ್ಟ ಮಾತ್ರಕ್ಕೆ ಆ ಸತ್ಯ ಆ ಋಷಿಯ ಸೃಷ್ಠಿಯಾಗುತ್ತದೆಯೇ? ಆ ಸತ್ಯ ಋಷಿಗೆ ಪೂರ್ವದಲ್ಲಿಯೇ ಇದ್ದುದು; ಆ ಋಷಿ ಮಾತ್ರವಲ್ಲ ಮನುಷ್ಯರೆಲ್ಲ ಮುಗಿದ ಮೇಲೆಯೂ ಆ ಸತ್ಯಕ್ಕೆ ಚ್ಯುತಿ ಬರುವುದಿಲ್ಲ. ಗುರುತ್ವಾಕರ್ಷಣ ಶಕ್ತಿ ನ್ಯೂಟನ್ನಿಗೆ ಪೂರ್ವದಲ್ಲಿಯೂ ಇತ್ತು, ಮನುಷ್ಯ ಕುಲವೇ ನಾಶವಾದ ಮೇಲೆಯೂ ಇರುತ್ತದೆ.

ಅಂತಹ ಸತ್ಯವನ್ನು ನಿತ್ಯ, ಸನಾತನ ಶಾಶ್ವತ ಎನ್ನುತ್ತೇವೆ. ಬೇರೆ ಬೇರೆ ದೇಶಗಳು, ಬೇರೆ ಬೇರೆ ಭಾಷೆಗಳೂ ಬೇರೆ ಬೇರೆ ಹೆಸರು ಕೊಡಬಹುದಷ್ಟೆ. ನನ್ನ ಜೀವನ ದರ್ಶನ ಅಂತಹ ಅಚ್ಯುತ ಸತ್ಯದ ಮೇಲೆ ನಿಂತಿದೆ. ನನ್ನ ಸಾಹಿತ್ಯವೂ ಅದನ್ನೆ ಅಭಿವ್ಯಕ್ತಗೊಳಿಸುತ್ತದೆ. ಅದನ್ನು ‘ನಿಮ್ಮಲ್ಲಿ’ ಕೆಲವರು ‘ವೈದಿಕ’ ಎಂದು ನಿಂದಿಸುವಂತೆ ‘ಅವರಲ್ಲಿ’ ಕೆಲವರು ‘ಅವೈದಿಕ’ ಎಂದೂ ತಿರಸ್ಕರಿಸುತ್ತಾರೆ. ಆದರೆ ನನ್ನ ಸಾಹಿತ್ಯ ಉದ್ಭವಿಸುವುದು ಬದುಕಿನಿಂದ, ಬದುಕಿಗಾಗಿ; ಮತ್ತು ಬದುಕಿನಾಚೆಯ ಬದುಕಿಗಾಗಿ.

ಲಂಕೇಶ್: ಈಚೆಗೊಬ್ಬರು ತಮ್ಮ ಸಾಮಾಜಿಕ ವಿಮರ್ಶೆಯನ್ನು ಕುರಿತು ಹೇಳುತ್ತಾ ‘ಕುವೆಂಪು ಅವರ ಮಾತಿನಲ್ಲಿ ಬ್ರಾಹ್ಮಣ ವಿರೋಧಿ ಧ್ವನಿ ಕೇಳಿ ಬರುತ್ತಿದ್ದರೆ ಅದಕ್ಕೆ ಕಾರಣವನ್ನು ಅವರ ವೈಯಕ್ತಿಕ ಅನುಭವದಲ್ಲಿ ಹುಡುಕಬೇಕು’ ಎಂದಿದ್ದಾರೆ. ಇದಕ್ಕೆ ತಮ್ಮ ಪ್ರತಿಕ್ರಿಯೆ?

ಕುವೆಂಪು: ಶುದ್ಧ ಅಪಾರ್ಥ! ಮೊದಲನೆಯದಾಗಿ ಅದು ಬ್ರಾಹ್ಮಣ ವಿರೋಧಿ ಧ್ವನಿಯಲ್ಲ. ಅಂದರೆ ಬೌದ್ಧ, ಜೈನ, ಕ್ರೈಸ್ತ, ಇಸ್ಲಾಂ ಮತ್ತು ಲಿಂಗಾಯಿತ ಪುರೋಹಿತಶಾಹಿಯನ್ನೂ ಒಳಗೊಂಡಿದೆ. ನನ್ನ ಪುರೋಹಿತಶಾಹಿ ಖಂಡನೆಗೆ ಕಾರಣವನ್ನು ನನಗಿರಬಹುದಾದ ವೈಯಕ್ತಿಕ ಅನುಭವದಲ್ಲಿ ಹುಡುಕುವುದು ಅತ್ಯಂತ ಹಾಸ್ಯಾಸ್ಪದ. ನನ್ನ ಮೂವತ್ತು ನಲವತ್ತು ವರ್ಷದ ಹಿಂದಿನ ಬರಹವನ್ನು ಯಾರೋ ಒಬ್ಬರು ಅಂದು ಟೀಕಿಸಿದುದಕ್ಕಾಗಿ ಇಂದು ನಾನು ನಲವತ್ತು ವರ್ಷಗಳ ಮೇಲೆ ರೊಚ್ಚು ತೀರಿಸಿಕೊಳ್ಳುವುದಕ್ಕೆ ಹಾಗೆ ಮಾತನಾಡಿದೆನೆಂದು ಹೇಳುವುದು ನನ್ನ ವ್ಯಕ್ತಿತ್ವಕ್ಕೆ ಅತ್ಯಂತ ‘ಅಲ್ಪತನ’ ಆರೋಪಿಸಿದಂತಾಗುತ್ತದೆ. ನಾನು ಅಷ್ಟು ‘ಸಣ್ಣ’ವನಲ್ಲ. ನಲವತ್ತು ಐವತ್ತು ವರ್ಷಗಳಿಂದಲೂ ನಾನು ಗದ್ಯ, ಪದ್ಯ, ನಾಟಕ ಎಲ್ಲದರಲ್ಲಿಯೂ ಹೇಳುತ್ತಾ ಬಂದಿರುವುದನ್ನೆ ಮೊನ್ನೆಯು ಹೇಳಿದ್ದೇನೆ ಅಷ್ಟೆ. ಆದರೆ ಇವರು ಯಾರೂ ನೀವೂ ಸೇರಿ, ನನ್ನ ಬರಹಗಳನ್ನು ಅಷ್ಟು ಆಸ್ಥೆಯಿಂದ ಓದಿಯೇ ಇಲ್ಲ ಎಂಬುದು ನನ್ನ ಗುಮಾನಿ. ಇಡೀ ರಾಮಾಯಣದರ್ಶನವೆ ನನ್ನ ‘ದರ್ಶನ’ಕ್ಕೆ ಒಡ್ಡಿದ ಮಹಾ ಪ್ರತಿಮೆಯಾಗಿದೆ. (ನಿಮ್ಮ ಎರಡನೆಯ ಪ್ರಶ್ನೆಗೆ ಕೊಟ್ಟಿರುವ ಉತ್ತರವನ್ನೂ ನೋಡಬಹುದು.)

ಲಂಕೇಶ್: ‘ಬ್ರಾಹ್ಮಣ’ ‘ಶೂದ್ರ’ ‘ಮಣ್ಣಿನ ವಾಸನೆ’ ಇತ್ಯಾದಿ ಮಾತು ಬಹಳವಾಗಿ ಕೇಳಿಬರುತ್ತಿರುವ ಈ ಕಾಲದಲ್ಲಿ ಬ್ರಾಹ್ಮಣ, ಶೂದ್ರರ ಭಾಷೆ, ಅನುಭವ ದೃಷ್ಟಿಯನ್ನು ಕುರಿತ ತಮ್ಮ ವಿಶ್ಲೇಷಣೆ ಏನು?

ಕುವೆಂಪು: ಈ ಮಾತುಗಳೆಲ್ಲ ಮತ್ತೆ ಪುರೋಹಿತಶಾಹಿಯ ಪಿತೂರಿಯ ಟಂಕಸಾಲೆಯ ನಾಣ್ಯಗಳೆ. ನಿಮ್ಮನ್ನು ದಿಕ್ಕು ತಪ್ಪಿಸಿ ಬದುಕಿನ ಋಜುಮಾರ್ಗದಿಂದ ಕಟಂಕಿತ ಮಾರ್ಗಕ್ಕೆ ತಳ್ಳುವ ಉಪಾಯದಿಂದಲೆ ಅವರು ಅವನ್ನು ಹುಟ್ಟಿಸಿದ್ದಾರೆ. ನೀವೂ ಹಿಂದಿನಂತೆಯೇ ಇಂದು ಬೆಪ್ಪುಗಳಾಗಿ ಅದಕ್ಕೆ ವಶರಾಗಿ, ಜನರ ಬದುಕನ್ನು ಮತಮೌಢ್ಯದಿಂದ ಪಾರು ಮಾಡಿ ಅವರನ್ನು ವೈಚಾರಿಕ ಬುದ್ಧಿ ಮತ್ತು ವೈಜ್ಞಾನಿಕ ದೃಷ್ಟಿ ಸಂಪನ್ನರಾಗಿ ಪರಿವರ್ತಿಸಿ ಅವರ ಮನಸ್ಸು ಮತ್ತು ಹೃದಯಗಳನ್ನು ಬೆಳಗುವ, ಅವರ ಸೋತ ಹೃದಯಗಳನ್ನು ಹುರಿದುಂಬಿಸುವ, ಮತ್ತು ವರ್ಣ, ಜಾತಿ ಭೇದಭಾವನೆಗಳನ್ನೆಲ್ಲ ಕಸದ ಬುಟ್ಟಿಗೆ ತೂರಿ ಅವರನ್ನು ಸಮಾನತಾವಾದಿಗಳನ್ನಾಗಿ ಪರಿವರ್ತಿಸುವ ಸಾಹಿತ್ಯ ಸೃಷ್ಟಿ ಮಾಡುವ ಬದಲು, ಗುಂಪುಗಾರಿಕೆಗಲ್ಲದೆ ಮತ್ತೆ ಯಾರಿಗೂ ಬೇಡದ ಮತ್ತು ಯಾರಿಗೂ ಅರ್ಥವಾಗದ ‘ನವ್ಯ’ ನಾಮಕ ವಿಕಾರ ಸೃಷ್ಟಿಗೆ ಮರುಳಾಗಿ ಹೋಗಿದ್ದೀರಿ. ಅಂತಹ ಕೃತಕ ಅನುಕರಣೀಯ ಪಂಥಗಳನ್ನೆಲ್ಲ ನಿಮ್ಮ ಹೃದಯದಿಂದ ಕಿತ್ತೊಗೆದು, ನಿಮ್ಮವರ ಬದುಕನ್ನು ನೇರವಾಗಿ ನೋಡಿ ಅದರಿಂದ ಉದ್ಭವಿಸುವ ಸಮಸ್ಯೆಗಳನ್ನು ಅರ್ಥ ಮಾಡಿಕೊಂಡು ಅವರನ್ನು ಮೇಲಕ್ಕೆತ್ತುವ ಧೀರಭಾವಗಳನ್ನೂ ಕ್ರಿಯಾಶೀಲ ಆದರ್ಶಗಳನ್ನೂ ನಿಮ್ಮ ಬರವಣಿಗೆಗಳಲ್ಲಿ ನೀಡಬೇಕಾಗಿರುವುದು ಸದ್ಯದ ನಿಮ್ಮ ಆದ್ಯ ಕರ್ತವ್ಯ. ಪುರೋಹಿತಶಾಹಿಯ ಮೆಚ್ಚುಗೆಗೂ ಹೊಗಳಿಕೆಗೂ ಹಾತೊರೆದು ಬಾಯಿ ಬಿಟ್ಟು ನಿಮ್ಮ ಪೌರುಷ ತೇಜಸ್ಸುಗಳಿಗೆ ಅಪಮಾನ ಮಡಿಕೊಳ್ಳುವುದನ್ನು ಒಡನೆಯೇ ನಿಲ್ಲಿಸಿಬಿಡಿ. (ಮಾನಸ ಗಂಗೋತ್ರಿಯಲ್ಲಿ ಏರ್ಪಡಿಸಿದ್ದ ಲೇಖಕರ ಗೋಷ್ಠಿಯನ್ನು ಉದ್ಘಾಟಿಸುತ್ತಾ ನಾನು ಮಾಡಿದ ಭಾಷಣವನ್ನು ಗಮನವಿಟ್ಟು ಓದಿ ನೋಡಿದರೆ ನನ್ನ ಅಭಿಪ್ರಾಯಗಳು ಸ್ಪಷ್ಟಗೊಳ್ಳುತ್ತವೆ.)

ಲಂಕೇಶ್: ಕನ್ನಡ ಸಾಹಿತಿಗಳು ಬಹುಕಾಲದಿಂದ ಈ ನಾಡ ಹೆಸರಿನ ಬದಲಾವಣೆ, ಕನ್ನಡ ಮಾಧ್ಯಮ ಕುರಿತು ಮಾತನ್ನಾಡುತಿದ್ದರೂ ಕೇವಲ ಹೆಸರಿನ ಬದಲಾವಣೆ ಮಾತ್ರ ಆಗಿ ಮಾಧ್ಯಮದ ಪ್ರಶ್ನೆ ಹಾಗೇ ಉಳಿದಿದೆ. ಇದು ಸಾಹಿತಿಯ ಪ್ರಭಾವದ ದೌರ್ಬಲ್ಯ ತೋರುತ್ತದೆಯೆ?

ಕುವೆಂಪು: ಹಾಗೇನಿಲ್ಲ, ಈಗಾಗಲೆ ತಕ್ಕಷ್ಟು ಕಾರ್ಯ ನಡೆದಿದೆ. ನಡೆಯುತ್ತಲೂ ಇದೆ. ಜನತೆ, ಸರಕಾರ, ಸಾಹಿತ್ಯ ಪರಿಷತ್ತು ಮತ್ತು ವಿಶ್ವವಿದ್ಯಾಲಯಗಳು ಎಲ್ಲವೂ ಕನ್ನಡ ಮಾಧ್ಯಮ ತತ್ವವನೊಪ್ಪಿ ಕ್ರಿಯಾಶೀಲವಾಗಿ ಮುಂದುವರೆಯುತ್ತಿವೆ. ಅದು ಪೂರ್ತಿ ಕೈಗೂಡಲು ತುಸು ಸಮಯ ಬೇಕಾಗಬಹುದು ಅಷ್ಟೆ.

ಲಂಕೇಶ್: ಈ ನಾಡ ತರುಣರಿಗೆ ತಮ್ಮ ಹಿತವಚನವೇನು?

ಕುವೆಂಪು: ನನ್ನ ಸಾಹಿತ್ಯದಲ್ಲಿ- ಕತೆ, ಕಾದಂಬರಿ, ಭಾವಗೀತೆ, ಕಾವ್ಯ, ಮಹಾಕಾವ್ಯ, ಜೀವನ ಚರಿತ್ರೆ, ಭಾಷಣ, ವಿಮರ್ಶೆ ಇತ್ಯಾದಿ- ನಾನು ಹೇಳಬೇಕಾದ್ದೆಲ್ಲವನ್ನೂ ಹೇಳಿದ್ದೇನೆ. ಇಷ್ಟವಿರುವ ತರುಣರು ಅವುಗಳನ್ನು ಮನಸ್ಸಿಟ್ಟು ಓದಲಿ. ವಿಶೇಷವಾಗಿ, ಅದರ ಮುನ್ನುಡಿ ಸಹಿತ ‘ಆತ್ಮಶ್ರೀಗಾಗಿ ನಿರಂಕುಶಮತಿಗಳಾಗಿ’ ಎಂಬ ಪುಸ್ತಕದ ನಾಲ್ಕು ಭಾಷಣಗಳನ್ನಾದರೂ ಓದಲಿ. ಆದರೆ ನಾಲ್ಕನ್ನೂ ಸಮಗ್ರವಾಗಿ ತೆಗೆದುಕೊಳ್ಳಬೇಕು, ಅಷ್ಟೆ.- ಸರ್ವೋದಯ, ಸಮನ್ವಯ ಮತ್ತು ಪೂರ್ಣದೃಷ್ಟಿ ಇವುಗಳೇ ಎಲ್ಲರ ಧ್ಯೇಯಮಂತ್ರಗಳಾಗಲಿ.

ಕೃಪೆ: -‘ಪಾಂಚಾಲಿ’ (ದೀಪಾವಳಿ-ರಾಜ್ಯೋತ್ಸವ ವಿಶೇಷ ಸಂಚಿಕೆ, ಪುಟ: 11-14, 1974)
ಸಂಪಾದಕರು: ಪಿ. ಲಂಕೇಶ್

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ1 day ago

ದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ

ಸುದ್ದಿದಿನ,ದಾವಣಗೆರೆ:ಫೆಬ್ರವರಿ 23 ರಿಂದ 27 ರವರೆಗೆ ನಡೆಯುವ ದುರ್ಗಾಂಬಿಕಾದೇವಿ ಜಾತ್ರೆ ಪ್ರಯಕ್ತ ದೇವಾಲಯಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಶೌಚಾಲಯಗಳ ವ್ಯವಸ್ಥೆ ಕಲ್ಪಿಸಲಾಗಿದೆ. ದೊಡ್ಡಪೇಟೆಯ ನಾಮದೇವ ಸಿಂಪಿ ಕಲ್ಯಾಣ ಮಂಟಪ,...

ದಿನದ ಸುದ್ದಿ1 day ago

ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ : ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ -2025ಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನಗಳಿಗೆ ಆಕ್ಷೇಪಣೆ, ತಕರಾರು ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ. ತಿರಸ್ಕೃತಗೊಂಡ...

ದಿನದ ಸುದ್ದಿ4 days ago

ಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ

ಸುದ್ದಿದಿನ,ಬೆಂಗಳೂರು: ಜಗತ್ತಿನ ಟೆಕ್ ದೈತ್ಯ ಕಂಪನಿ ಗೂಗಲ್ ತನ್ನ ಉದ್ಯೋಗಿಗಳಿಗೆ ಶಾಕ್ ನೀಡಿದೆ. AI ಕಲಿಯದಿದ್ದರೆ ಉದ್ಯೋಗ ತೊರೆಯುವಂತೆ ಸೂಚಿಸಿದ್ದು, ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಘೋಷಿಸಿದೆ....

ದಿನದ ಸುದ್ದಿ4 days ago

ಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಶಿಕ್ಷಕರಿಗೆ ಡಿಸಿ ಗಂಗಾಧರಸ್ವಾಮಿ ಸೂಚನೆ

ಸುದ್ದಿದಿನ,ದಾವಣಗೆರೆ:ಮಾರ್ಚ್ 18 ರಿಂದ ಪ್ರಾರಂಭವಾಗುವ ಎಸ್.ಎಸ್.ಎಲ್.ಸಿ ಫಲಿತಾಂಶವನ್ನು ಹೆಚ್ಚಿಸಲು ಶಿಕ್ಷಕರು ಮತ್ತು ಮುಖ್ಯೋಪಾಧ್ಯಾಯರು ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದರು. ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ತುಂಗಭದ್ರಾ...

ದಿನದ ಸುದ್ದಿ5 days ago

ಫೆ.14 ರಂದು ಸಂತ ಸೇವಾಲಾಲ್‌ರವರ 287ನೇ ಜಯಂತಿ ಕಾರ್ಯಕ್ರಮ

ಸುದ್ದಿದಿನ,ದಾವಣಗೆರೆ:ಸಂತ ಸೇವಾಲಾಲ್‌ರವರ 287ನೇ ಜಯಂತ್ಸೋವ ಕಾರ್ಯಕ್ರಮವು ಫೆ. 14 ರಂದು ಮಧ್ಯಾಹ್ನ 2 ಗಂಟೆಗೆ ನ್ಯಾಮತಿ ತಾಲ್ಲೂಕಿನ ಭಾಯಾಗಡ್-ಸೂರಗೊಂಡನಕೊಪ್ಪದಲ್ಲಿ ನಡೆಯಲಿದೆ. ಜಿಲ್ಲಾಡಳಿತ, ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ...

ದಿನದ ಸುದ್ದಿ6 days ago

ಕನ್ನಡಭಾಷೆಯಲ್ಲಿ ನಾಮಫಲಕ ಕಡ್ಡಾಯ : ಆಯುಕ್ತೆ ರೇಣುಕಾ ಆದೇಶ

ಸುದ್ದಿದಿನ,ದಾವಣಗೆರೆ:ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಉದ್ದಿಮೆ ಮಳಿಗೆಗಳು ಕಡ್ಡಾಯವಾಗಿ ಶೇ.60 ರಷ್ಟು ಕನ್ನಡ ಭಾಷೆಯಲ್ಲಿ ನಾಮಫಲಕವನ್ನು ಅಳವಡಿಸಬೇಕು ಎಂದು ಮಹಾನಗರ ಪಾಲಿಕೆ ಆಯುಕ್ತೆ ರೇಣುಕಾ ತಿಳಿಸಿದ್ದಾರೆ. ಒಂದು...

ದಿನದ ಸುದ್ದಿ6 days ago

ದಾವಣಗೆರೆ | ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೊಟ್ರೇಶ್ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ದಾವಣಗೆರೆ:ದಾವಣಗೆರೆ ತಾಲ್ಲೂಕಿನ ಕಂದಗಲ್ಲು ಗ್ರಾಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಶ್ರೀ ಲಿಂಗೇಶ್ವರ ಹಿರಿಯ ಪ್ರಾಥಮಿಕ ಅನುದಾನಿತ ಶಾಲೆಯು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಆಡಳಿತಕ್ಕೆ ಒಳಪಟ್ಟಿದೆ. ನಿಯಮಬಾಹಿರವಾಗಿ ಸಾಮಾನ್ಯ...

ದಿನದ ಸುದ್ದಿ2 weeks ago

ಕಾಲೇಜು ಶಿಕ್ಷಣ ಇಲಾಖೆ ಪ್ರಾದೇಶಿಕ ಜಂಟಿ ನಿರ್ದೇಶಕ ಹೆಚ್. ಕೇಶವ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ಶಿವಮೊಗ್ಗ:ಎಸ್.ಜೆ.ಎಂ ವಿದ್ಯಾಪೀಠ (ರಿ), ಚಿತ್ರದುರ್ಗ ಇಲ್ಲಿ ಬ್ಯಾಕ್‌ಲಾಗ್ ಅಡಿಯಲ್ಲಿ ನೇಮಕ ಮಾಡಿಕೊಳ್ಳಲಾದ ಹುದ್ದೆಗಳನ್ನು ಇಲಾಖಾ ತನಿಖೆ ನಡೆಸುವಂತೆ ಕೋರಿ ಅರ್ಜಿ ಸಲ್ಲಿಸಿ 2 ತಿಂಗಳು ಕಳೆದರೂ ಯಾವುದೇ...

ದಿನದ ಸುದ್ದಿ3 weeks ago

ದೇವದಾಸಿ ಪುನರ್‍ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್‍ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ,...

ದಿನದ ಸುದ್ದಿ3 weeks ago

ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ

ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ  ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ...

Trending