ದಿನದ ಸುದ್ದಿ
ಸತತ ಮೂರನೇ ಅವಧಿಗೆ ಪ್ರಧಾನಿಯಾಗಿ ನಾಳೆ ನರೇಂದ್ರ ಮೋದಿ ಪ್ರಮಾಣವಚನ ಸ್ವೀಕಾರ
ಸುದ್ದಿದಿನಡೆಸ್ಕ್: ನಿಯೋಜಿತ ಪ್ರಧಾನಿ ನರೇಂದ್ರ ಮೋದಿ ಅವರು ನಿನ್ನೆ ಸಂಜೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು. ಭಾನುವಾರ ಸಂಜೆ ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದ್ದು, ರಾತ್ರಿ 7.15ಕ್ಕೆ ರಾಷ್ಟ್ರಪತಿಗಳು ನರೇಂದ್ರ ಮೋದಿ ಮತ್ತು ಅವರ ನೂತನ ಸಚಿವ ಸಂಪುಟಕ್ಕೆ ಪ್ರಮಾಣ ವಚನ ಬೋಧಿಸಲಿದ್ದಾರೆ.
ಇದಕ್ಕೂ ಮುನ್ನ ನಿನ್ನೆ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ನೇತೃತ್ವದ ಎನ್‌ಡಿಎ ನಿಯೋಗವೂ ರಾಷ್ಟ್ರಪತಿ ಅವರನ್ನು ಭೇಟಿ ಮಾಡಿ, ಬಿಜೆಪಿ ಸಂಸದೀಯ ಪಕ್ಷದ ನಾಯಕರಾಗಿ ನರೇಂದ್ರ ಮೋದಿ ಅವರನ್ನು ಆಯ್ಕೆ ಮಾಡಲಾಗಿದೆ ಎಂಬ ಪತ್ರವನ್ನು ಸಲ್ಲಿಸಿತು.
ಎನ್‌ಡಿಎ ಮೈತ್ರಿಕೂಟದ ಪಕ್ಷಗಳ ಬೆಂಬಲ ಪತ್ರವನ್ನೂ ರಾಷ್ಟ್ರಪತಿಗಳಿಗೆ ಹಸ್ತಾಂತರಿಸಲಾಯಿತು. ರಾಷ್ಟ್ರಪತಿ ಭವನದ ಹೊರಗೆ ಮಾತನಾಡಿದ ನಿಯೋಜಿತ ಪ್ರಧಾನಿ ನರೇಂದ್ರ ಮೋದಿ, ಎನ್‌ಡಿಎ ಪ್ರಬಲ, ಸ್ಥಿರ ಮತ್ತು ಬೆಳವಣಿಗೆ ಆಧಾರಿತ ಸರ್ಕಾರವನ್ನು ರಚಿಸಲಿದೆ ಎಂದು ಹೇಳಿದರು.
ರಾಷ್ಟ್ರಪತಿ ಭವನವು ಪ್ರಮಾಣವಚನ ಸಮಾರಂಭದ ಕಾರ್ಯಕ್ರಮವನ್ನು ರೂಪಿಸಲಿದ್ದು, ಅಷ್ಟರೊಳಗೆ ಮಂತ್ರಿಮಂಡಲದ ಪಟ್ಟಿಯನ್ನು ರಾಷ್ಟ್ರಪತಿಗಳಿಗೆ ಹಸ್ತಾಂತರಿಸಲಾಗುವುದು ಎಂದು ಅವರು ತಿಳಿಸಿದರು. ಜನರು ಎನ್‌ಡಿಎ ಸರ್ಕಾರಕ್ಕೆ ಮತ್ತೊಂದು ಅವಕಾಶ ನೀಡಿದ್ದಾರೆ.
18ನೇ ಲೋಕಸಭೆಯು ಹೊಸ ಮತ್ತು ಯುವ ಶಕ್ತಿಯ ಸದನವಾಗಿದೆ. ತಮ್ಮ ಸರ್ಕಾರ ದೇಶದ ಜನರ ಆಶಯ ಮತ್ತು ಆಕಾಂಕ್ಷೆಗಳನ್ನು ಈಡೇರಿಸಲಿದೆ ಎಂದು ನರೇಂದ್ರ ಮೋದಿ ಹೇಳಿದರು. ಸ್ಥಿರ ಸರ್ಕಾರವು ಭಾರತ ಮತ್ತು ಅದರ ಆರ್ಥಿಕತೆ ಮತ್ತು ಯುವಜನತೆಗೆ ಪ್ರಯೋಜನಕಾರಿ ಎಂದು ಸಾಬೀತುಪಡಿಸುತ್ತದೆ. ರಾಷ್ಟ್ರವನ್ನು ತ್ವರಿತಗತಿಯಲ್ಲಿ ಅಭಿವೃದ್ಧಿಪಡಿಸಲು ತಮ್ಮ ಸರ್ಕಾರ ಯಾವುದೇ ಅವಕಾಶವನ್ನು ಕೈಬಿಡುವುದಿಲ್ಲ ಎಂದು ಅವರು ಭರವಸೆ ನೀಡಿದರು.
ಮತ್ತೊಂದೆಡೆ, ಸಂವಿಧಾನದ 75ನೇ ವಿಧಿಯ ಅಡಿಯಲ್ಲಿ ತನ್ನಲ್ಲಿರುವ ಅಧಿಕಾರವನ್ನು ಚಲಾಯಿಸುವ ಮೂಲಕ ಭಾರತದ ಪ್ರಧಾನಮಂತ್ರಿಯಾಗಿ ನರೇಂದ್ರ ಮೋದಿ ಅವರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನಿಯೋಜಿಸಿದ್ದಾರೆ ಎಂದು ರಾಷ್ಟ್ರಪತಿ ಭವನ ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ತಿಳಿಸಿದೆ.
The President will administer the oath of office and secrecy to the Prime Minister and other members of the Union Council of Ministers at 7.15 pm on June 09, 2024, at Rashtrapati Bhavan.
— President of India (@rashtrapatibhvn) June 7, 2024
ಇದಕ್ಕೂ ಮುನ್ನ ನರೇಂದ್ರ ಮೋದಿ ಅವರು, ಲೋಕಸಭೆಯಲ್ಲಿ ಎನ್‌ಡಿಎ ಸಂಸದೀಯ ಪಕ್ಷದ ನಾಯಕರಾಗಿ ಆಯ್ಕೆಯಾದರು. ಮೋದಿಯವರ ಹೆಸರನ್ನು ಸೂಚಿಸಿದ ರಾಜನಾಥ್ ಸಿಂಗ್, ಈ ಹುದ್ದೆಗೆ ಮೋದಿ ಅವರೇ ಸೂಕ್ತ ವ್ಯಕ್ತಿಯಾಗಿದ್ದಾರೆ ಎಂದು ಹೇಳಿದ್ದಾರೆ.
ರಾಜನಾಥ್ ಸಿಂಗ್ ಅವರು, ಮಂಡಿಸಿದ ಸೂಚನೆಗೆ ಕೇಂದ್ರ ಸಚಿವರಾದ ಅಮಿತ್ ಶಾ ಮತ್ತು ನಿತಿನ್ ಗಡ್ಕರಿ ಅನುಮೋದನೆ ನೀಡಿದ್ದಾರೆ. ಈ ವೇಳೆ ಟಿಡಿಪಿ ಮುಖ್ಯಸ್ಥ ಎನ್.ಚಂದ್ರಬಾಬು ನಾಯ್ಡು ಮಾತನಾಡಿ, ನರೇಂದ್ರ ಮೋದಿ ಅವರ ದೂರದರ್ಶಿತ್ವದ ನಾಯಕತ್ವದಲ್ಲಿ ಕಳೆದ ಹತ್ತು ವರ್ಷಗಳ ಅವಧಿಯಲ್ಲಿ ಹಲವಾರು ಪ್ರಮುಖ ಉಪಕ್ರಮಗಳನ್ನು ಎನ್‌ಡಿಎ ಸರ್ಕಾರ ಕೈಗೊಂಡಿದೆ ಎಂದು ಹೇಳಿದ್ದಾರೆ.
ಈ ಅವಧಿಯಲ್ಲಿ ದೇಶ, ದಾಖಲೆ ಎನಿಸಬಹುದಾದ ಪ್ರಗತಿ ಹಾಗೂ ಬದಲಾವಣೆಯನ್ನು ಕಂಡಿದೆ. ಸೂಕ್ತ ಕಾಲದಲ್ಲಿ ಸೂಕ್ತ ನಾಯಕನನ್ನು ಭಾರತ ಹೊಂದಿದ್ದು, ಅವರೇ ನರೇಂದ್ರ ಮೋದಿಯವರಾಗಿದ್ದಾರೆ ಎಂದು ಚಂದ್ರಬಾಬು ನಾಯ್ಡು ಹೇಳಿದ್ದಾರೆ. ನರೇಂದ್ರ ಮೋದಿ ಅವರಿಗೆ ಬೆಂಬಲ ಸೂಚಿಸಿ ಮಾತನಾಡಿದ ಬಿಹಾರದ ಮುಖ್ಯಮಂತ್ರಿ ಹಾಗೂ ಜೆಡಿಯು ನಾಯಕ ನಿತೀಶ್ ಕುಮಾರ್, ಮೋದಿ ಅವರ ನಾಯಕತ್ವದಲ್ಲಿ ನಾವೆಲ್ಲಾ ಒಗ್ಗಟ್ಟಿನಿಂದ ಕೆಲಸ ಮಾಡುತ್ತೇವೆ. ಮೋದಿಯವರು ದೇಶಕ್ಕಾಗಿ ಸೇವೆ ಸಲ್ಲಿಸಿದ್ದಾರೆ.
ಮೂರನೇ ಅವಧಿಯನ್ನು ಯಾವುದೇ ಅಡೆ-ತಡೆ ಇಲ್ಲದೆ ಪೂರೈಸಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.ಮಹಾರಾಷ್ಟ್ರದ ಮುಖ್ಯಮಂತ್ರಿ ಮತ್ತು ಶಿವಸೇನೆಯ ಶಿಂಧೆ ಬಣದ ನಾಯಕ ಏಕನಾಥ್ ಶಿಂಧೆ, ಎಲ್‌ಜೆಪಿ ರಾಮ್‌ವಿಲಾಸ್ ಬಣದ ಮುಖ್ಯಸ್ಥ ಚಿರಾಂಗ್ ಪಾಸ್ವಾನ್, ಎನ್‌ಸಿಪಿ ನಾಯಕ ಅಜಿತ್ ಪವಾರ್, ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್, ಅಪ್ನಾದಳ್-ಎಸ್ ನಾಯಕಿ ಅನುಪ್ರಿಯಾ ಪಟೇಲ್ ಮತ್ತು ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಸೂಚನೆಗೆ ಬೆಂಬಲ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ನರೇಂದ್ರ ಮೋದಿ, ಹಲವು ಪಕ್ಷಗಳನ್ನೊಳಗೊಂಡ ಎನ್‌ಡಿಎ ಮೈತ್ರಿಕೂಟ, ಅಧಿಕಾರಕ್ಕಾಗಿ ರಚನೆಯಾದ ಒಕ್ಕೂಟವಲ್ಲ. ದೇಶ ಮೊದಲು ಎಂಬ ಸ್ಫೂರ್ತಿಯೊಂದಿಗೆ ಕೆಲಸ ಮಾಡಲು ಒಕ್ಕೂಟ ಬದ್ಧವಾಗಿದೆ ಎಂದು ಹೇಳಿದರು. ಭಾರತದ ಇತಿಹಾಸದಲ್ಲಿ ಎನ್‌ಡಿಎ ಅತ್ಯಂತ ಯಶಸ್ವಿ ಮೈತ್ರಿಕೂಟವಾಗಿದೆ ಮತ್ತು ಎಲ್ಲ ನಿರ್ಧಾರಗಳನ್ನು ಒಟ್ಟಾಗಿ ಕೈಗೊಳ್ಳುವುದು ನಮ್ಮೆಲ್ಲರ ಗುರಿಯಾಗಿರುತ್ತದೆ. ದೇಶದ ಜನತೆ ಇಂದು 22 ರಾಜ್ಯಗಳಲ್ಲಿ ಸರ್ಕಾರ ರಚನೆಗೆ ಎನ್‌ಡಿಎಗೆ ಅವಕಾಶ ಮಾಡಿಕೊಟ್ಟಿದೆ ಎಂದರು. ಕಳೆದ ಹತ್ತು ವರ್ಷಗಳಲ್ಲಿ ದೇಶವನ್ನು ಅಭಿವೃದ್ಧಿಯಲ್ಲಿ ಹೊಸ ಎತ್ತರಕ್ಕೆ ಕೊಂಡೊಯ್ಯಲು ಎನ್‌ಡಿಎ ಶ್ರಮಿಸಿದೆ. ಉತ್ತಮ ಆಡಳಿತ ನೀಡಲು ಎನ್‌ಡಿಎ ಮೈತ್ರಿಕೂಟದ ಎಲ್ಲ ನಾಯಕರು ಆಧಾರಸ್ತಂಭವಾಗಿ ನಿಂತಿದ್ದಾರೆ ಎಂದು ನರೇಂದ್ರ ಮೋದಿ ಹೇಳಿದರು.
The passing away of Shri Ramoji Rao Garu is extremely saddening. He was a visionary who revolutionized Indian media. His rich contributions have left an indelible mark on journalism and the world of films. Through his noteworthy efforts, he set new standards for innovation and… pic.twitter.com/siC7aSHUxK
— Narendra Modi (@narendramodi) June 8, 2024
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಮಾತನಾಡಿ, ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎ, ಸತತ ಮೂರನೇ ಬಾರಿಗೆ ಬಹುಮತ ಗಳಿಸಿದೆ. ಒಡಿಶಾ ಮತ್ತು ಆಂಧ್ರಪ್ರದೇಶದಲ್ಲೂ ಬಿಜೆಪಿ ಗೆಲುವು ಸಾಧಿಸಿದ್ದು, ಮೆಚ್ಚುಗೆಯ ವಿಚಾರವಾಗಿದೆ ಎಂದು ಹೇಳಿದರು.
ಸಭೆಯಲ್ಲಿ ಆರ್‌ಎಲ್‌ಡಿ ಮುಖ್ಯಸ್ಥ ಜಯಂತ್ ಚೌಧರಿ, ಕೇಂದ್ರ ಸಚಿವರಾದ ಪಿಯುಶ್ ಗೋಯಲ್ ಮತ್ತು ಅನುರಾಗ್ ಸಿಂಗ್ ಠಾಕೂರ್ ಸೇರಿದಂತೆ ಅನೇಕ ಸಚಿವರು ಉಪಸ್ಥಿತರಿದ್ದರು.
ಅಲ್ಲದೇ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್, ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್, ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್, ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವ ಶರ್ಮಾ, ಮಣಿಪುರ ಮುಖ್ಯಮಂತ್ರಿ ಬೀರೇನ್ ಸಿಂಗ್ ಸಭೆಯಲ್ಲಿ ಪಾಲ್ಗೊಂಡಿದ್ದರು.
ಎನ್‌ಡಿಎ ಮೈತ್ರಿಕೂಟದ ನಾಯಕರಾಗಿ ಆಯ್ಕೆಯಾದ ನಂತರ ಪ್ರಧಾನಿ ನರೇಂದ್ರ ಮೋದಿ ಅವರು, ಬಿಜೆಪಿ ಹಿರಿಯ ನಾಯಕರಾದ ಎಲ್.ಕೆ.ಅಡ್ವಾಣಿ ಮತ್ತು ಡಾ.ಮುರಳಿ ಮನೋಹರ ಜೋಶಿ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ನಂತರ ಮೋದಿ ಅವರು, ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ದೆಹಲಿ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಾನವ ಸಂಪನ್ಮೂಲ ನೀತಿ ಗುತ್ತಿಗೆ ನೌಕರರಿಗೆ ಮಾರಕ | ನೀತಿ ರದ್ದುಗೊಳಿಸಲು ಶಾಸಕ ಜೆ.ಎಸ್.ಬಸವಂತಪ್ಪಗೆ ಮನವಿ
ಸುದ್ದಿದಿನ,ದಾವಣಗೆರೆ: ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳ ಪ್ರಸ್ತಾವನೆ ಎನ್ಎಚ್ ಎಂ ಸಿಬ್ಬಂದಿಗಳಲ್ಲಿ ಆತಂಕ ಮೂಡಿಸಿದ್ದು, ಮುಖ್ಯಮಂತ್ರಿಗಳು ಹಾಗೂ ಆರೋಗ್ಯ ಸಚಿವರು ಮಧ್ಯಸ್ತಿಕೆ ವಹಿಸಿ ಸರಿಪಡಿಸಲು ಶಿಪಾರಸ್ಸು ಮಾಡಬೇಕು. ಈ ಬಗ್ಗೆ ಬೆಳಗಾವಿಯ ಚಳಿಗಾಲ ಅಧಿವೇಶನದಲ್ಲಿ ಪ್ರಸ್ತಾಪ ಮಾಡಬೇಕೆಂದು ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘದ ಜಿಲ್ಲಾ ಪದಾಧಿಕಾರಿಗಳು ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಅವರಿಗೆ ಶನಿವಾರ ಮನವಿ ಸಲ್ಲಿಸಿದರು.
ರಾಷ್ಟ್ರೀಯ ಆರೋಗ್ಯ ಅಭಿಯಾನ ಅಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಸುಮಾರು 30 ಸಾವಿರ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುತ್ತಿದ್ದು, ಈ ಸಿಬ್ಬಂದಿಗಳಿಗೆ ನೇಮಕಾತಿ ಮತ್ತು ವರ್ಗಾವಣೆ ಒಳಗೊಂಡು ಮಾನವ ಸಂಪನ್ಮೂಲ (HR Policy) ನೀತಿಯನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಕಳೆದ ಅ.28ರಂದು ಆದೇಶ ಹೊರಡಿಸಿ, ಅಭಿಯಾನ ನಿರ್ದೇಶಕರು, ಮುಖ್ಯ ಆಡಳಿತಾಧಿಕಾರಿಗಳು ಹಾಗೂ ಮುಖ್ಯ ಆರ್ಥಿಕ ಅಧಿಕಾರಿಗಳಿಗೆ ವರದಿ ನೀಡಲು ಸೂಚನೆ ನೀಡಿದ್ದಾರೆ.
ಈ ವಿಷಯದ ಬಗ್ಗೆ ಈಗಾಗಲೇ ಅಭಿಯಾನ ನಿರ್ದೇಶಕರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಎಲ್ಲಾ ಗುತ್ತಿಗೆ ನೌಕರರ ವೃಂದವಾರು ಸಂಘಟನೆಗಳ ಅಭಿಪ್ರಾಯ ನೀಡಲಾಗಿದೆ. ಎಲ್ಲಾ ಸಂಘಟನೆಗಳು ಈ ಒಂದು ಹೊಸ ಸಿಬ್ಬಂದಿಗಳಿಗೆ ಮಾರಕ ಇರುವಂತಹ ಮಾನವ ಸಂಪನ್ಮೂಲ ನೀತಿಯನ್ನು ಜಾರಿಗೊಳಿಸಲು ವಿರೋಧ ವ್ಯಕ್ತಪಡಿಸಿವೆ.
ಸರ್ಕಾರ ಈಗ ನೀಡುತ್ತಿರುವ ಕಡಿಮೆ ವೇತನದಲ್ಲಿ ಈ ಸಿಬ್ಬಂದಿಗಳು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದಾರೆ. ಈ ಸಿಬ್ಬಂದಿಗಳಿಗೆ ಖಾಯಂ ಸಿಬ್ಬಂದಿಗಳಂತೆ ಕಡ್ಡಾಯ ವರ್ಗಾವಣೆ ಮಾಡಿದರೆ ಈ ಕಡಿಮೆ ವೇತನದಲ್ಲಿ ಕುಟುಂಬ ನಿರ್ವಹಣೆ ಹೇಗೆ ಸಾಧ್ಯ? ಮೂರು ಮೂರು ತಿಂಗಳಿಗೊಮ್ಮೆ ವೇತನ ಆಗುತ್ತಿದ್ದು ಬೇರೆ ಜಿಲ್ಲೆಗೆ ಕಡ್ಡಾಯ ವರ್ಗಾವಣೆ ಮಾಡಿದ್ದರೆ ಮನೆ ಬಾಡಿಗೆ ಕಟ್ಟಲಾಗದೇ ಬೀದಿಗೆ ಬರಬೇಕಿದೆ ಎಂದು ಶಾಸಕರಿಗೆ ಮನವರಿಕೆ ಮಾಡಿದರು.
ಒಂದು ವೇಳೆ ಇಂತಹ ಕ್ರಮ ಕೈಗೊಂಡರೆ ಖಾಯಂ ಸಿಬ್ಬಂದಿಗಳಿಗೆ ನೀಡಿದಂತೆ ಎಲ್ಲಾ ಸೌಕರ್ಯ ಹಾಗೂ ಖಾಯಂ ಸೇರಿದಂತೆ ವೇತನ ಹೆಚ್ಚಳ ಮಾಡಿ, ಟಿಎ, ಡಿಎ, ಎಚ್ ಆರ್ ಎ ನೀಡಿ ಇಂತಹ ಆದೇಶ ಮಾಡಬೇಕು. ಸಿಬ್ಬಂದಿಗಳಿಗೆ ಬೆನ್ನು ತಟ್ಟಿ ಕೆಲಸ ಮಾಡಿಸಿಕೊಳ್ಳಬೇಕು.ಅದು ಬಿಟ್ಟು ಹೊಟ್ಟೆ ಮೇಲೆ ಹೊಡೆಯುವಂತಹ ಯಾವುದೇ ಆದೇಶ ಹೊರಡಿಸುವುದು ಎಷ್ಟು ಸರಿ ಎಂದು ಸಿಬ್ಬಂದಿಗಳು ಪ್ರಶ್ನೆ ಮಾಡಿದ್ದಾರೆ.
ಪ್ರಧಾನ ಕಾರ್ಯದರ್ಶಿಗಳ ಈ ಒಂದು ಪತ್ರ 30 ಸಾವಿರ ನೌಕರರಿಗೆ ಆತಂಕ ಸೃಷ್ಟಿ ಮಾಡಿದೆ. ಇದು ಈ ವರ್ಷದಲ್ಲಿ ಮೊದಲ ಸಾರಿ ಅಲ್ಲದೆ ಇದೇ ವರ್ಷ ಸಾಕಷ್ಟು ಮಾನಸಿಕ ಒತ್ತಡ ಹೆಚ್ಚಳವಾಗಿರುವ ಅನೇಕ ಆದೇಶ ಮಾಡಿದ್ದಾರೆ.
ಪ್ರತಿ ವರ್ಷ ಏಪ್ರಿಲ್ ಒಂದನೇ ತಾರೀಖು ಎಲ್ಲಾ ನೌಕರರಿಗೆ ಒಂದು ದಿವಸ ವಿರಾಮ ನೀಡಿ ಮುಂದುವರೆಸುತ್ತಿದ್ದು 2005 ರಿಂದ ಸುಮಾರು 20 ವರ್ಷಗಳವರೆಗೆ ಈ ಪದ್ಧತಿ ನಡೆದುಕೊಂಡು ಬಂದಿದೆ. ಆದರೆ ಈ ವರ್ಷ ಏಕಾಏಕಿ ಕೇವಲ 15 ದಿವಸ ವಿಸ್ತರಣೆ ನೀಡಿ, ತದನಂತರ ಒಂದು ತಿಂಗಳು ವಿಸ್ತರಣೆ ನೀಡಿ ಆಮೇಲೆ ಮೂರು ತಿಂಗಳ ವಿಸ್ತರಣೆ ನೀಡಿ ತದನಂತರ ಸಿಬ್ಬಂದಿಗಳಿಗೆ ಕರ್ತವ್ಯದಿಂದ ವಿಮುಕ್ತಿಗೊಳಿಸುವ ಆದೇಶ ನೀಡಿದ್ದು ನಮ್ಮ ಸಂಘಟನೆಯಿಂದ ಕೋರ್ಟ್ ನಲ್ಲಿ ದಾವೆ ಹೂಡಿದ್ದು ಇದೆ, ಕಳೆದ 8 ತಿಂಗಳಲ್ಲಿ ವೇತನ ಪಡೆಯಲು ಸರಿಯಾಗಿ ಅನುದಾನ ಬಿಡುಗಡೆ ಆಗದೇ ಸಿಬ್ಬಂದಿಗಳು ಪರದಾಡುವಂತಾಗಿದೆ. ಈ ಬಗ್ಗೆ ಸದನದಲ್ಲಿ ಗಮನ ಸೆಳೆದು ನಮಗೆ ನ್ಯಾಯ ಕೊಡಿಸಬೇಕೆಂದು ಶಾಸಕರಲ್ಲಿ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಸಂಘದ ಜಿಲ್ಲಾಧ್ಯಕ್ಷ ಹಾಲಸ್ವಾಮಿ, ಪ್ರಧಾನ ಕಾರ್ಯದರ್ಶಿ ಡಾ.ಮಂಜುನಾಥ್, ಸುನೀಲ್, ಸುರೇಶ್, ಮಹಾಲಿಂಗಪ್ಪ, ಬಸವರಾಜ್, ದೊಡ್ಡಮನಿ, ಡಾ.ರೇಣುಕಾ, ಇನ್ನಿತರರಿದ್ದರು.”
- ಪ್ರಧಾನ ಕಾರ್ಯದರ್ಶಿಗಳ ಆದೇಶ ರದ್ದುಗೊಳಿಸಲು ಎನ್ ಎಚ್ ಎಂ ಸಿಬ್ಬಂದಿಗಳು ಆಗ್ರಹ
- ಈ ಬಗ್ಗೆ ಬೆಳಗಾವಿ ಚಳಿಗಾಲ ಅಧಿವೇಶನದಲ್ಲಿ ಚರ್ಚಿಸಲು ಶಾಸಕ ಕೆ.ಎಸ್.ಬಸವಂತಪ್ಪಗೆ ಸಿಬ್ಬಂದಿಗಳ ಮನವಿ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಕನ್ನಡ ಚಳವಳಿ ಸಮಿತಿಯಿಂದ ಇಮ್ಮಡಿ ಪುಲಕೇಶಿ ಜಯಂತಿ ಆಚರಣೆ
ಸುದ್ದಿದಿನ,ದಾವಣಗೆರೆ:ನಗರದ ಜಯದೇವ ವೃತ್ತದಲ್ಲಿರುವ ಅಖಿಲ ಕರ್ನಾಟಕ ಕನ್ನಡ ಚಳವಳಿ ಕೇಂದ್ರ ಸಮಿತಿಯಿಂದ ಗುರುವಾರ (ಡಿಸೆಂಬರ್.4) ಕನ್ನಡ ಚಳವಳಿಯ ಕಚೇರಿಯ ಆವರಣದಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ರಾಜ್ಯ ಉಪಾಧ್ಯಕ್ಷರಾದ ಟಿ ಶಿವಕುಮಾರ್ ಅವರು ಇಮ್ಮಡಿ ಪುಲ್ಲಕೇಶಿ ಸಾಮ್ರಾಟ್ ರವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.
ನಂತರ ಜಿಲ್ಲಾಧ್ಯಕ್ಷರಾದ ಶಿವರತನ್ ಮಾತನಾಡಿ ,ನಾಡಿನ ಇತಿಹಾಸ ಪುಟಗಳಲ್ಲಿ ಕಣ್ಮರೆಯಾಗಿರುವ ಕನ್ನಡದ ಶ್ರೇಷ್ಠ ಸಾಮ್ರಾಟರಲ್ಲಿ ಇಮ್ಮಡಿ ಪುಲಿಕೇಶಿ ಅಗ್ರ ಸ್ಥಾನ ಪಡೆದಿದ್ದಾರೆ. ಇಂತಹ ಮಹಾನ್ ಸಾಮ್ರಾಟರನ್ನ ನೆನಪಿಸಿ ಮುಂದಿನ ಪೀಳಿಗೆಗೆ ಪರಿಚಯಿಸುವ ಜವಾಬ್ದಾರಿಯನ್ನು ನಾವೆಲ್ಲರೂ ಹೊರಬೇಕಾಗಿದೆ ಎಂದರು.
ಭಾರತೀಯ ನೌಕಾಪಡೆಯ ಪಿತಾಮಹ ಎಂದೇ ಕರೆಯಲಾಗುವ ಇಮ್ಮಡಿ ಪುಲಿಕೇಶಿ ಸಾಮ್ರಾಟರ ಜನ್ಮದಿನದ ಪ್ರಯುಕ್ತ ಭಾರತೀಯ ನೌಕಾಪಡೆ ದಿನಾಚರಣೆಯೆoದು ಆಚರಿಸುವುದು ಕನ್ನಡಿಗರಿಗೆ ಹೆಮ್ಮೆಯ ವಿಚಾರ.
ಬೇರೆಲ್ಲ ಜಯಂತಿಗಳನ್ನು ಆಚರಿಸುವ ಸರ್ಕಾರಗಳು ಇಮ್ಮಡಿ ಪುಲಿಕೇಶಿ ಜಯಂತಿಯನ್ನು ಕಡ್ಡಾಯವಾಗಿ ಎಲ್ಲೆಡೆ ಆಚರಿಸಲು ಆಡಳಿತಾತ್ಮಕವಾಗಿ ಜಾರಿಗೊಳಿಸಲು ಆದೇಶ ಹೊರಡಿಸಬೇಕು ಎಂದು ಆಗ್ರಹಿಸಿದರು.
ಮಹಿಳಾ ಅಧ್ಯಕ್ಷೆ ಶುಭಮಂಗಳ ಅವರು ಸಿಹಿ ವಿತರಿಸಿದರು. ಕನ್ನಡ ಚಳವಳಿಯ ಹಿರಿಯ ಹೋರಾಟಗಾರರು , ಕನ್ನಡ ಚಳವಳಿಯ ಮಾಜಿ ಅಧ್ಯಕ್ಷರಾದ ಬಂಕಾಪುರ ಚನ್ನಬಸಪ್ಪ, ದಾ.ಹ. ಶಿವಕುಮಾರ್. ಈಶ್ವರ್. ಪ್ರಕಾಶ್. ವಾರ್ತಾ ಇಲಾಖೆ ನಿವೃತ್ತ ಬಿ.ಎಸ್. ಬಸವರಾಜ್ ಹಾಗೂ ಹಲವಾರು ಕನ್ನಡಪರ ಹೋರಾಟಗಾರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಕ್ರಮಿಸುತ್ತಿರುವ ಅರ್ಹ ಸಂಘ, ಸಂಸ್ಥೆಗಳಿಗೆ ಮತ್ತು ವ್ಯಕ್ತಿಗಳನ್ನೊಳಗೊಂಡಂತೆ ಕ್ರೀಡೆ, ಕಲೆ, ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಮಹಿಳೆಯರು ಹಾಗೂ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಆತ್ಮಸ್ಥೆರ್ಯದಿಂದ ಹೋರಾಡಿ ಜೀವನೋಪಾಯದಿಂದ ಪಾರು ಮಾಡಿದಂತಹ ಮಹಿಳೆಯರಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಹ ಮಹಿಳೆಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿಯನ್ನು ಉಪನಿರ್ದೇಶಕರು ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ದಾವಣಗೆರೆ ಪಡೆದು ಅಗತ್ಯ ದಾಖಲೆಗಳೊಂದಿಗೆ ಡಿಸೆಂಬರ್ 24 ರೊಳಗಾಗಿ ಉಪ ನಿರ್ದೇಶಕರು, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸರ್ಕಾರಿ ಬಾಲಕರ ಬಾಲಮಂದಿರ ಕಟ್ಟಡ, 14ನೇ ಮುಖ್ಯ ರಸ್ತೆ, ಕುವೆಂಪುನಗರ, ಎಂ.ಸಿ.ಸಿ, ‘ಬಿ’ ಬ್ಲಾಕ್, ದಾವಣಗೆರೆ ದೂ.ಸಂ:08192-264056 ಸಲ್ಲಿಸಬೇಕೆಂದು ಇಲಾಖೆಯ ಉಪನಿರ್ದೇಶಕರಾದ ರಾಜಾನಾಯ್ಕ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days agoದಾವಣಗೆರೆ | ಜಿಲ್ಲಾ ಪಂಚಾಯಿತಿ ಸಿ.ಇ.ಒ ಗಿತ್ತೆ ಮಾಧವ್ ವಿಠ್ಠಲ್ ರಾವ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ5 days agoದುಡಿಯುವ ವರ್ಗಕ್ಕೆ ಸ್ಥಳದಲ್ಲೇ ಉಚಿತ ಚಿಕಿತ್ಸೆ : ಶಾಸಕ ಕೆ.ಎಸ್.ಬಸವಂತಪ್ಪ ‘ಸಂಚಾರಿ ಆರೋಗ್ಯ ಘಟಕ’ಕ್ಕೆ ಚಾಲನೆ
-
ದಿನದ ಸುದ್ದಿ5 days agoಜಿಎಂ ವಿಶ್ವವಿದ್ಯಾಲಯ ರಂಗೋತ್ಸವ -2025 | ವಿದ್ಯಾರ್ಥಿಗಳ ಪ್ರತಿಭೆ ಅನಾವರಣ : ಸ್ಪರ್ಧೆಯಲ್ಲಿ ರಂಗ ಪ್ರೇಮ, ನಟನಾ ಚತುರತೆ ಬೆರಗು
-
ದಿನದ ಸುದ್ದಿ5 days agoಉಳಿಕೆ ಸರ್ಕಾರಿ ನಿವೇಶನ ಇಲಾಖೆಗಳ ವಿವಿಧ ಉದ್ದೇಶಿತ ಕಟ್ಟಡಗಳಿಗೆ ಹಂಚಿಕೆ: ಡಿಸಿ ಜಿ.ಎಂ.ಗಂಗಾಧರಸ್ವಾಮಿ
-
ದಿನದ ಸುದ್ದಿ5 days agoಸಹಾಯಧನಕ್ಕಾಗಿ ಅರ್ಜಿ ಆಹ್ವಾನ
-
ದಿನದ ಸುದ್ದಿ1 day agoಮಾನವ ಸಂಪನ್ಮೂಲ ನೀತಿ ಗುತ್ತಿಗೆ ನೌಕರರಿಗೆ ಮಾರಕ | ನೀತಿ ರದ್ದುಗೊಳಿಸಲು ಶಾಸಕ ಜೆ.ಎಸ್.ಬಸವಂತಪ್ಪಗೆ ಮನವಿ
-
ದಿನದ ಸುದ್ದಿ3 days agoದಾವಣಗೆರೆ | ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ1 day agoದಾವಣಗೆರೆ | ಕನ್ನಡ ಚಳವಳಿ ಸಮಿತಿಯಿಂದ ಇಮ್ಮಡಿ ಪುಲಕೇಶಿ ಜಯಂತಿ ಆಚರಣೆ

