ದಿನದ ಸುದ್ದಿ

ಓಬವ್ವ ಆತ್ಮ ರಕ್ಷಣಾ ಕಲೆ ಕರಾಟೆ ಯೋಜನೆಗೆ 18 ಕೋಟಿ ರೂಪಾಯಿ ಮೀಸಲು

Published

on

ಸುದ್ದಿದಿನ,ಯಾದಗಿರಿ : ರಾಜ್ಯ ವಸತಿ ಶಾಲೆಗಳ ಹೆಣ್ಣು ಮಕ್ಕಳ ಆತ್ಮರಕ್ಷಣೆಗಾಗಿ ರೂಪಿಸಿರುವ ಓಬವ್ವ ಆತ್ಮರಕ್ಷಣಾ ಕಲೆ ಕರಾಟೆ ಯೋಜನೆಯ ಅನುಷ್ಠಾನಕ್ಕಾಗಿ 18 ಕೋಟಿ ರೂಪಾಯಿ ವೆಚ್ಚ ಮಾಡಲಾಗುತ್ತಿದೆ ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ತಿಳಿಸಿದರು.

ಯಾದಗಿರಿ ಜಿಲ್ಲೆಯ ವಡಗೇರಾ ತಾಲ್ಲೂಕಿನ ಬೆಂಡೆಬೆಂಬಳಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲಾ ವಿದ್ಯಾರ್ಥಿಗಳು ನಡೆಸಿಕೊಟ್ಟ ಕರಾಟೆ ಪ್ರದರ್ಶನ ವೀಕ್ಷಿಸಿ ಮಾತನಾಡಿದ ಅವರು, ಹೆಣ್ಣು ಮಕ್ಕಳಿಗೆ ಆತ್ಮರಕ್ಷಣೆ ಕಲೆ ಅಗತ್ಯವಾಗಿದ್ದು, ಈ ಹಿನ್ನೆಲೆಯಲ್ಲಿ ಸರ್ಕಾರ ಓಬವ್ವ ಆತ್ಮರಕ್ಷಣಾ ಕಲೆ ಕರಾಟೆ ಯೋಜನೆಯನ್ನು ರಾಜ್ಯದ ಎಲ್ಲ ವಸತಿ ಶಾಲೆಗಳಲ್ಲಿ ಆರಂಭಿಸಿದೆ. ಈಗಾಗಲೇ ಒಂದು ಸಾವಿರ ಕರಾಟೆ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗಿದೆ. ಮಕ್ಕಳ ಕರಾಟೆ ಕಲೆ ಹಾಗೂ ಸಮವಸ್ತ್ರಕ್ಕಾಗಿ 18 ಕೋಟಿ ರೂಪಾಯಿ ವೆಚ್ಚ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಬಡವರು, ಆರ್ಥಿಕವಾಗಿ ಹಿಂದುಳಿದವರು, ಅಲೆಮಾರಿಗಳ ಮಕ್ಕಳೇ ವಿಶೇಷವಾಗಿ ಈ ವಸತಿ ಶಾಲೆಗಳಿಗೆ ದಾಖಲಾಗುತ್ತಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಸರ್ಕಾರ ಬದ್ಧವಾಗಿದೆ. ಈ ಹಿನ್ನೆಲೆಯಲ್ಲಿ ವಸತಿ ಶಾಲೆಗಳನ್ನು ಮತ್ತುಷ್ಟು ಬಲಪಡಿಸಲು ಕ್ರಮ ವಹಿಸಲಾಗುವುದು ಎಂದು ಸಚಿವರು ತಿಳಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version