ದಿನದ ಸುದ್ದಿ
ಇದೇ 12 ರಂದು ದಾವಣಗೆರೆಯಲ್ಲಿ ಪಾರಂಪರಿಕ ಬೀಜೋತ್ಸವ; ಒಂದು ಸಾವಿರಕ್ಕೂ ಹೆಚ್ಚು ದೇಸಿ ಧಾನ್ಯಗಳ ಪ್ರದರ್ಶನ
ಸುದ್ದಿದಿನ, ದಾವಣಗೆರೆ : ದೇಸಿಯ ಬಿತ್ತನೆ ಬೀಜಗಳ ವೈವಿಧ್ಯದ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಇದೇ 12ರಂದು ದಾವಣಗೆರೆ ಕೃಷಿ ವಿಜ್ಞಾನ ಕೇಂದ್ರದ ಆವರಣದಲ್ಲಿ ‘ಪಾರಂಪರಿಕ ಬೀಜೋತ್ಸವ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ.ದೇವರಾಜ್ ಹೇಳಿದ್ದಾರೆ.
ಒಂದು ದಿನದ ಈ ಉತ್ಸವದಲ್ಲಿ ದೇಶದ ವಿವಿಧ ಭಾಗಗಳಿಂದ 30ಕ್ಕೂ ಹೆಚ್ಚಿನ ಬೀಜ ಸಂರಕ್ಷಕರ ತಂಡಗಳು ಪಾಲ್ಗೊಳ್ಳಲಿವೆ. ವಿವಿಧ ದೇಸಿ ತಳಿಗಳನ್ನು ಪ್ರದರ್ಶಿಸಲಾಗುತ್ತಿದ್ದು, ಒಂದು ಸಾವಿರಕ್ಕೂ ಹೆಚ್ಚಿನ ದೇಸಿ ಧಾನ್ಯ, ತರಕಾರಿ, ಕಾಳು, ಗೆಡ್ಡೆ ಗೆಣಸು, ಸೊಪ್ಪು ಮತ್ತು ಹಣ್ಣಿನ ತಳಿಗಳು ಪ್ರದರ್ಶನಗೊಳ್ಳಲಿವೆ.
ಗುಣಮಟ್ಟದ ಭತ್ತ, ಸಿರಿಧಾನ್ಯ ಮತ್ತು ತರಕಾರಿ ಬೀಜಗಳು ಮಾರಾಟಕ್ಕೆ ಸಿಗಲಿವೆ. ಕೆಂಪು ಬಣ್ಣದ ’ಸಿದ್ಧ ಹಲಸು’ ಮತ್ತು ಇತರೆ ಹಣ್ಣಿನ ಗಿಡಗಳು ಮಾರಾಟಕ್ಕೆ ಲಭ್ಯವಿರುತ್ತವೆ. ರೈತ ವಿಜ್ಞಾನಿಗಳು ಅಭಿವೃದ್ಧಿಪಡಿಸಿದ ಭತ್ತದ ತಳಿಗಳ ಮಾರಾಟಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಹೇಳಿದರು.
ಅಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆವರೆಗೆ ನಡೆಯುವ ಕಾರ್ಯಕ್ರಮವನ್ನು ರಾಜ್ಯೋತ್ಸವ ಪ್ರಶಸ್ತಿ ವಿಜೇತೆ ಕೋಲಾರದ ಬೀಜಮಾತೆ ಪಾಪಮ್ಮ ಮತ್ತು ಮೈಸೂರಿನ ಬೀಜಮಾತೆ ಪದ್ಮಾವತಮ್ಮ ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243