ದಿನದ ಸುದ್ದಿ
ಮಹಿಳೆಗೆ ಮೀಸಲಾತಿ ಬೇಡ, ಸಮಾನ ಪ್ರಾತಿನಿಧ್ಯ ಕೊಡಿ : ಡಾ.ಜ್ಯೋತಿ ಟಿ.ಬಿ
ಸುದ್ದಿದಿನ, ಚನ್ನಗಿರಿ (ಬಸವಾಪಟ್ಟಣ) : ಭಾರತೀಯ ಸಮಾಜದಲ್ಲಿ ಮೀಸಲಾತಿಯಿಂದ ಮಾತ್ರ ಮಹಿಳಾ ಪ್ರಗತಿ ಸಾಧ್ಯವಿಲ್ಲ. ಅವಳಿಗೆ ಪುರುಷನಂತೆ ಸಮಾನವಾದ ಪ್ರಾತಿನಿಧ್ಯ ನೀಡಿದಲ್ಲಿ ಮಾತ್ರವೇ ಮಹಿಳಾ ಪ್ರಗತಿ ಸಾಧ್ಯ. ಆಗ ಮಾತ್ರವೇ ಸದೃಢವಾದ ಭಾರತ ನಿರ್ಮಾಣವಾಗಲು ಸಾಧ್ಯ ಎಂದು ಸಂತೆಬೆನ್ನೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕಿ ಡಾ.ಜ್ಯೋತಿಯವರು ಅಭಿಪ್ರಾಯ ವ್ಯಕ್ತಪಡಿಸಿದರು.
ಜನತಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ಆಯೋಜಿಸಿದ್ದ ರಾಷ್ಟ್ರೀಯ ಐಕ್ಯತ ಸಪ್ತಾಹದ ಅಡಿಯಲ್ಲಿ ‘ಭಾರತೀಯ ಸಮಾಜ ಹಾಗೂ ರಾಷ್ಟ್ರದ ಪ್ರಗತಿಯಲ್ಲಿ ಮಹಿಳೆಯರ ಪ್ರಾಮುಖ್ಯತೆ’ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಿದ ಅವರು, ಮಹಿಳೆಗೆ ಎಲ್ಲಿಯವರೆಗೆ ಮುಕ್ತವಾದ ಪ್ರಾತಿನಿಧ್ಯ ಲಭಿಸುವುದಿಲ್ಲವೋ ಅಲ್ಲಿಯವರೆಗೆ ಎಷ್ಟೇ ಕಾಯ್ದೆ, ಕಾನೂನುಗಳು ಜಾರಿಯಾದರೂ ಮಹಿಳೆಯರ ಬದುಕಿನಲ್ಲಿ ಸಮಗ್ರ ಬದಲಾವಣೆ ನಿರೀಕ್ಷಿಸಲು ಸಾಧ್ಯವಿಲ್ಲ ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದ ಪ್ರಾಂಶುಪಾಲರಾದ ಡಾ.ಎಂ.ಆರ್. ಲೋಕೇಶ್ ಅವರು ಮಾತನಾಡಿ ಭಾರತೀಯ ಸಮಾಜದಲ್ಲಿ ಹೆಣ್ಣು ಸ್ವಾಭಿಮಾನದ ಬದುಕನ್ನು ಕಟ್ಟಿಕೊಳ್ಳುವುದು ಕೇವಲ ಆರ್ಥಿಕತೆಯಿಂದ ಸಾಧ್ಯವಿಲ್ಲ ಎಂದರು.
ನೈತಿಕತೆ, ಸಂಸ್ಕಾರವು ಕೂಡ ಅತ್ಯಂತ ಮಹತ್ವದ ಪಾತ್ರ ವಹಿಸುತ್ತದೆ. ಹೀಗಾಗಿಯೇ ಶರಣರು ಗಂಡು-ಹೆಣ್ಣು ಎಂಬ ಬೇಧವನ್ನು ಮೆಟ್ಟಿ ನಿಂತು ‘ಒಳಗೆ ಸುಳಿವ ಆತ್ಮ ಹೆಣ್ಣು ಅಲ್ಲ, ಗಂಡು ಅಲ್ಲ’ ಎಂಬ ತಾತ್ವಿಕತೆಯ ಮೂಲಕ ಸರ್ವರನ್ನು ಸಮಾನವಾಗಿ ಕಾಣುವಂತಹ ಸಮಾಜಕ್ಕಾಗಿ ಶ್ರಮಿಸಿದರು. ಭಾರತದ ನೆಲದಲ್ಲಿ ಶರಣರು, ದಾರ್ಶನಿಕರು ರೂಪಿಸಿಕೊಟ್ಟ ಮಾರ್ಗದಲ್ಲಿ ನಡೆದು ಇಂದಿನ ಮಹಿಳೆಯರು ಸಬಲರಾಗಬೇಕು ಎಂಬುದಾಗಿ ತಿಳಿಸಿದರು.
ಸಮಾಜಶಾಸ್ತ್ರದ ಮುಖ್ಯಸ್ಥರಾದ ಡಾ.ಎ.ಡಿ.ಬಸವರಾಜ್ ಅವರು ಪ್ರಾಸ್ತವಿಕ ಮಾತುಗಳನ್ನಾಡಿದರು. ಕಾರ್ಯಕ್ರಮದಲ್ಲಿ ಬೋಧಕರಾದ ಹನುಮಂತಪ್ಪ, ಪ್ರಕಾಶ್, ಮಧುಸೂಧನ್, ರೆಹಮತ್ಬಿ, ಸಂದೀಪ್ ಮುಂತಾದವರು ಹಾಜರಿದ್ದರು. ಕಾರ್ಯಕ್ರಮವನ್ನು ಗೋವಿಂದರೆಡ್ಡಿ ಅವರು ನಿರೂಪಿಸಿದರು. ವಿದ್ಯಾರ್ಥಿನಿ ಸೌಂದರ್ಯ ಸ್ವಾಗತಿಸಿದರು, ಯಶೋಧ, ಸಹನಾ ಪ್ರಾರ್ಥಿಸಿದರು, ರಕ್ಷಿತ ವಂದಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕಾಲೇಜು ಶಿಕ್ಷಣ ಇಲಾಖೆ ಪ್ರಾದೇಶಿಕ ಜಂಟಿ ನಿರ್ದೇಶಕ ಹೆಚ್. ಕೇಶವ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ಶಿವಮೊಗ್ಗ:ಎಸ್.ಜೆ.ಎಂ ವಿದ್ಯಾಪೀಠ (ರಿ), ಚಿತ್ರದುರ್ಗ ಇಲ್ಲಿ ಬ್ಯಾಕ್‌ಲಾಗ್ ಅಡಿಯಲ್ಲಿ ನೇಮಕ ಮಾಡಿಕೊಳ್ಳಲಾದ ಹುದ್ದೆಗಳನ್ನು ಇಲಾಖಾ ತನಿಖೆ ನಡೆಸುವಂತೆ ಕೋರಿ ಅರ್ಜಿ ಸಲ್ಲಿಸಿ 2 ತಿಂಗಳು ಕಳೆದರೂ ಯಾವುದೇ ತನಿಖಾ ವರದಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ನಿರ್ಲಕ್ಷ್ಯ ತೋರಿದ ಕಾಲೇಜು ಶಿಕ್ಷಣ ಇಲಾಖೆ, ಶಿವಮೊಗ್ಗ ಇಲ್ಲಿಯ ಜಂಟಿ ನಿರ್ದೇಶಕರಾದ ಶ್ರೀ ಕೇಶವ ಹೆಚ್. ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಎಸ್.ಜೆ.ಎಂ ವಿದ್ಯಾಪೀಠ (ರಿ), ಚಿತ್ರದುರ್ಗ ಇಲ್ಲಿ 2022ನೇ ಸಾಲಿನಲ್ಲಿ ಬ್ಯಾಕ್‌ಲಾಗ್ ಅಡಿಯಲ್ಲಿ ಅರ್ಥಶಾಸ್ತç (ಎಸ್.ಟಿ), ರಾಜ್ಯಶಾಸ್ತç (ಎಸ್.ಸಿ), ಗ್ರಂಥಪಾಲಕರು (ಎಸ್.ಟಿ) ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗಿದ್ದು, ಇಲ್ಲಿ ಅಂತಿಮವಾಗಿ ಆಯ್ಕೆ ಮಾಡಿಕೊಳ್ಳಲಾದ ನೇಮಕಾತಿ ಪ್ರಕ್ರಿಯೆಯು ಪಾರದರ್ಶಕವಾಗಿ ನಡೆದಿರುವ ಬಗ್ಗೆ ಅನುಮಾನ ವ್ಯಕ್ತವಾಗಿ ಜಂಟಿ ನಿರ್ದೇಶಕರು, ಕಾಲೇಜು ಶಿಕ್ಷಣ ಇಲಾಖೆ, ಶಿವಮೊಗ್ಗ ಇವರಿಗೆ ದಿನಾಂಕ: 24-11-2025 ರಂದು ಅರ್ಜಿ ಸಲ್ಲಿಸಿ, ಬ್ಯಾಕ್ ಲಾಗ್ ನೇಮಕಾತಿಯ ಬಗ್ಗೆ ತನಿಖೆ ನಡೆಸಿ, ತನಿಖಾ ವರದಿಯನ್ನು ನೀಡುವಂತೆ ಕೋರಲಾಗಿತ್ತು.
ಅರ್ಜಿ ಸಲ್ಲಿಸಿ ಒಂದು ತಿಂಗಳಾದರೂ ಯಾವುದೇ ಮಾಹಿತಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ಇರುವ ಕಾರಣ ಜ್ಞಾಪನ ನೀಡಿ 7 ದಿನಗಳ ಒಳಗಾಗಿ ತನಿಖಾ ವರದಿಯನ್ನು ನೀಡುವಂತೆ ವಿನಂತಿಸಲಾಗಿತ್ತು. ಆದರೆ ಜಂಟಿ ನಿರ್ದೇಶಕರು, ಕಾಲೇಜು ಶಿಕ್ಷಣ ಇಲಾಖೆ, ಶಿವಮೊಗ್ಗ ಇವರು ಅರ್ಜಿ ಸಲ್ಲಿಸಿ 2 ತಿಂಗಳಾದರೂ ಕನಿಷ್ಠ ಹಿಂಬರಹವನ್ನಾದರೂ ನೀಡದೆ ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವ ಮೂಲಕ ಕರ್ತವ್ಯ ಲೋಪ ಎಸಗಿದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದೇವದಾಸಿ ಪುನರ್‍ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್‍ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್‍ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್‍ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್‍ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ
ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.


