ದಿನದ ಸುದ್ದಿ

ವಿಧಾನ ಪರಿಷತ್ತಿನ ನಾಲ್ಕು ಸ್ಥಾನಗಳಿಗೆ ನಾಳೆ ಮತದಾನ : ಆಯೋಗದಿಂದ ಸಕಲ ಸಿದ್ಧತೆ

Published

on

ಸುದ್ದಿದಿನ ಡೆಸ್ಕ್ : ರಾಜ್ಯ ವಿಧಾನಪರಿಷತ್ತಿನ ನಾಲ್ಕು ಸ್ಥಾನಗಳಿಗೆ ನಾಳೆ ಮತದಾನ ನಡೆಯಲಿದ್ದು, ಇದಕ್ಕಾಗಿ ಚುನಾವಣಾ ಆಯೋಗ ಸಕಲ ಸಿದ್ದತೆ ಮಾಡಿಕೊಂಡಿದೆ.

ಎರಡು ಪದವಿಧರ ಹಾಗೂ ಎರಡು ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ದಕ್ಷಿಣ ಪದವೀಧರ ಕ್ಷೇತ್ರದಿಂದ ನಡೆಯುವ ಚುನಾವಣೆಗೆ ಚಾಮರಾಜನಗರ ಜಿಲ್ಲೆಯಲ್ಲಿ ಸಕಲ ಸಿದ್ದತೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ತಿಳಿಸಿದ್ದಾರೆ.

ದಕ್ಷಿಣ ಪದವಿಧರ ಕ್ಷೇತ್ರಕ್ಕೆ ಚಾಮರಾಜನಗರ, ಮೆಸೂರು, ಮಂಡ್ಯ, ಹಾಸನ ಜಿಲ್ಲೆಗಳು ಒಳಪಟ್ಟಿದ್ದು ಒಟ್ಟು 19 ಅಭ್ಯರ್ಥಿಗಳು ಕಣದಲ್ಲಿದ್ದಾರೆ. 12 ಮತಗಟ್ಟೆ ಸ್ಥಾಪಿಸಲಾಗಿದೆ. ಜಿಲ್ಲಾ ವ್ಯಾಪ್ತಿಯಲ್ಲಿ 12 ಸಾವಿರದ 147 ಮತದಾರರಿದ್ದಾರೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.

ಪಶ್ಚಿಮ ಶಿಕ್ಷಕರ ಮತ ಕ್ಷೇತ್ರದ ಚುನಾವಣೆ ಹಿನ್ನಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ 15 ಮತಗಟ್ಟೆ ಸುತ್ತ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ. ನಾಳೆ ಬೆಳಿಗ್ಗೆ 7ರಿಂದ ಸಂಜೆ 6 ಗಂಟೆಯವರೆಗೂ ಮತಗಟ್ಟೆ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ನಡೆಯುವ ಸಂತೆ, ಜಾತ್ರೆಗಳನ್ನು ನಿಷೇಧಿಸಲಾಗಿದೆ.

ಪಶ್ಚಿಮ ಶಿಕ್ಷಕರ ಮತಕ್ಷೇತ್ರದ ಚುನಾವಣೆಗೆ ಹಾವೇರಿ ಜಿಲ್ಲಾಡಳಿತ ಸನ್ನದ್ಧವಾಗಿದೆ ಎಂದು ಜಿಲ್ಲಾಧಿಕಾರಿ ಸಂಜಯ ಶೆಟ್ಟಣ್ಣನವರ ತಿಳಿಸಿದ್ದಾರೆ. ನಾಳೆ ಮತದಾನ ಜರುಗಲಿದ್ದು, 15 ರಂದು ಮತ ಎಣಿಕೆ ನಡೆದು ಅಂದೇ ಫಲಿತಾಂಶ ಹೊರಬೀಳುವ ಸಾಧ್ಯತೆಯಿದೆ.

ಪಶ್ಚಿಮ ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಅರ್ಹ ಮತದಾರರು ಮತ ಚಲಾಯಿಸಲು ಅನುಕೂಲವಾಗುವಂತೆ ಅಂದು ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡಲಾಗಿದೆ ಎಂದು ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತ ಅಮ್ಲಾನ್ ಆದಿತ್ಯ ಬಿಸ್ವಾಸ್ ತಿಳಿಸಿದ್ದಾರೆ.

ವಾಯುವ್ಯ ಪಧವೀದರ ಮತ್ತು ಶಿಕ್ಷಕರ ಚುನಾವಣೆಗಾಗಿ ಬಾಗಲಕೋಟೆ ತಹಶೀಲ್ದಾರ್ ಕಚೇರಿಯಲ್ಲಿ ಸ್ಥಾಪಿಸಲಾದ ವಿವಿಧ ಮಸ್ಟರಿಂಗ್ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್ ಭೇಟಿ ನೀಡಿ ಪರಿಶೀಲಿಸಿದರು. ಪಧವೀದರ ಮತಕ್ಷೇತ್ರದಲ್ಲಿ ಒಟ್ಟು 33 ಸಾವಿರದ 651 ಹಾಗೂ ಶಿಕ್ಷಕರ ಮತಕ್ಷೇತ್ರದಲ್ಲಿ 5 ಸಾವಿರದ 173 ಮತದಾರರಿದ್ದಾರೆ ಜಿಲ್ಲೆಯಲ್ಲಿ 48 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ ಎಂದು ಅವರು ತಿಳಿಸಿದರು.

ಗದಗ ಜಿಲ್ಲೆಯ ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ಒಟ್ಟು 3 ಸಾವಿರದ 300 ಮತದಾರರಿದ್ದು, ಎಲ್ಲಾ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎಂ. ಸುಂದರೇಶ ಬಾಬು ತಿಳಿಸಿದ್ದಾರೆ.

ಜಿಲ್ಲೆಯಲ್ಲಿ 15 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಕೋವಿಡ್ ಮಾರ್ಗಸೂಚಿ ಪಾಲನೆಗಾಗಿ ಆರೋಗ್ಯ ಇಲಾಖೆ ಸಿಬ್ಬಂದಿಯನ್ನು ನೇಮಿಸಲಾಗಿದೆ.

ವಿಜಯಪುರ, ಬಾಗಲಕೋಟೆ, ಬೆಳಗಾವಿ, ಮೈಸೂರು, ಚಾಮರಾಜನಗರ, ಮಂಡ್ಯ, ಹಾಸನ, ಧಾರವಾಡ, ಹಾವೇರಿ, ಗದಗ ಮತ್ತು ಉತ್ತರ ಕನ್ನಡ ಜಿಲ್ಲೆ ವ್ಯಾಪ್ತಿಯ ಶಿಕ್ಷಕರು ಹಾಗೂ ಅರ್ಹ ಪದವೀಧರರು ಮತ ಚಲಾಯಿಸುವ ಹಕ್ಕು ಹೊಂದಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version