Connect with us

ದಿನದ ಸುದ್ದಿ

ನಕಲಿ ಟಿವಿಗಳು, ಸುಳ್ಳು ಸುದ್ದಿ ನೀಡುವ ಸ್ಥಳೀಯ ಟಿವಿ ಚಾನೆಲ್‍ಗಳ ಬಗ್ಗೆ ನಿಗಾ ವಹಿಸಿ

Published

on

ಸುದ್ದಿದಿನ,ದಾವಣಗೆರೆ : ಕೇಬಲ್ ಟೆಲಿವಿಷನ್ ನೆಟ್‍ವರ್ಕ್, ದರ ಮತ್ತು ಪ್ರಸಾರಕ್ಕೆ ಸಂಬಂಧಿಸಿದಂತಹ ದೂರುಗಳಿದ್ದರೆ ಸಾರ್ವಜನಿಕರು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯ ಜಿಲ್ಲಾ ಮಟ್ಟದ ಕೇಬಲ್ ಟೆಲಿವಿಷನ್ ನಿರ್ವಹಣಾ ಸಮಿತಿಗೆ ದೂರು ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಫೆ.28 ರಂದು ಏರ್ಪಡಿಸಲಾಗಿದ್ದ ದಾವಣಗೆರೆ ಜಿಲ್ಲಾ ಮಟ್ಟದ ಕೇಬಲ್ ಟೆಲಿವಿಷನ್ ನಿರ್ವಹಣಾ ಸಮಿತಿಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸ್ಥಳೀಯ ಕೇಬಲ್ ಟಿವಿ ಪ್ರಸಾರ ಮಾಡುವ ಕಾರ್ಯಕ್ರಮಗಳ ಕುರಿತು ಕೇಬಲ್ ಟೆಲಿವಿಷನ್ ನಿರ್ವಹಣಾ ಸಮಿತಿಯು ನಿರಂತರ ನಿಗಾ ವಹಿಸಬೇಕು ನಕಲಿ ಚಾನೆಲ್‍ಗಳು ಕಾರ್ಯನಿರ್ವಹಿಸದಂತೆ ಕಟ್ಟುನಿಟ್ಟಾಗಿ ಗಮನ ಹರಿಸಬೇಕು ಹಾಗೂ ಸುಳ್ಳು ಸುದ್ದಿ ಪ್ರಸಾರ ಮಾಡಿದರೆ ತಕ್ಷಣ ನಿರ್ಬಂಧಿಸಲು ಕ್ರಮ ವಹಿಸಬೇಕು ಎಂದರು.

ಸ್ಥಳೀಯ ಕೇಬಲ್ ಟಿವಿಗಳು ಕಾಲ ಕಾಲಕ್ಕೆ ಯಾವೆಲ್ಲ ರೀತಿಯ ಕಾರ್ಯಕ್ರಮಗಳನ್ನು ಪ್ರಸಾರ ಮಾಡುತ್ತಿದೆ ಎಂಬುದನ್ನು ನೋಡಬೇಕು. ಹಾಗೂ ಪ್ರಸಾರವಾಗುತ್ತಿರುವ ಕಾರ್ಯಕ್ರಮಗಳ ಕುರಿತು ಸಾರ್ವಜನಿಕ ಅಭಿಪ್ರಾಯ ಸಂಗ್ರಹಿಸಬೇಕು. ವ್ಯಕ್ತಿ, ಧರ್ಮ, ಸಮುದಾಯಗಳ ಪರ ಅಥವಾ ವಿರುದ್ದವಾಗಿ ಏನಾದರೂ ಪ್ರಸಾರ ಆಗುತ್ತಿದೆಯೇ ಎಂಬ ಬಗ್ಗೆ ಸಮೀಕ್ಷೆ ನಡೆಸಬೇಕು ಎಂದರು.

ಉಚಿತ ಚಾನೆಲ್‍ಗಳು ಪ್ರಸಾರವಾಗುತ್ತಿವೆಯೇ ಎಂಬದನ್ನು ಖಾತ್ರಿಪಡಿಸಿಕೊಳ್ಳಬೇಕು. ಅಜ್ಞಾಪಕ ಕಾರ್ಯಕ್ರಮಗಳ ಪ್ರಸಾರದ ಬಗ್ಗೆ ನಿಗಾ ವಹಿಸಬೇಕು. ಹಾಗೂ ಜಿಲ್ಲೆಯ ಕೇಬಲ್ ಪ್ರಸಾರ ಮಾಡುವ ಎಂಎಸ್‍ಓ ಗಳ ಸಭೆಯನ್ನು ಕರೆದು ದರ ನಿಗದಿ ಬಗ್ಗೆ ಸೂಚನೆಗಳನ್ನು ನೀಡಬೇಕು ಎಂದರು.

ಶಿಕ್ಷಣ ತಜ್ಞ ರುದ್ರಮನಿ ಹಿರೇಮಠ್ ಮಾತನಾಡಿ, ಹಳ್ಳಿಯಲ್ಲಿ ಒಂದು ರೀತಿ ದರ, ನಗರ ಪ್ರದೇಶದ ವಿವಿಧ ಪ್ರದೇಶಗಳಲ್ಲಿ ಒಂದೊಂದು ರೀತಿಯ ದರ ಸಂಗ್ರಹಿಸುತ್ತಾರೆ. ಹಾಗೂ ಕೆಲವು ಚಾನೆಲ್‍ಗಳನ್ನು ಪ್ರಸಾರ ಮಾಡುವಲ್ಲಿಯೂ ಸಹ ಸಮಸ್ಯೆ ಇದ್ದು ಇದನ್ನು ಸರಿಪಡಿಸಬೇಕೆಂದರು.

ವಕೀಲೆ ಸುಜಾತ ಮಾತನಾಡಿ, ಕೇಬಲ್ ಟೆಲಿವಿಷನ್ ದರವು ಏರಿಯಾವಾರು ಹೆಚ್ಚು ಕಮ್ಮಿ ಇದ್ದು, ಸಾರ್ವತ್ರಿಕ ದರ ನಿಗದಿಗೊಳಿಸಿ ಅದನ್ನು ಪಾಲಿಸುವಂತೆ ನಿರ್ದೇಶನ ನೀಡಬೇಕೆಂದು ತಿಳಿಸಿದರು.

ವಾರ್ತಾಧಿಕಾರಿ ಅಶೋಕ್‍ಕುಮಾರ್.ಡಿ ಮಾತನಾಡಿ, ಕಳೆದ ವರ್ಷ ಹರಿಹರದಲ್ಲಿ ನಿಷೇಧಿತ ‘ಕ್ಯೂ’ ಟಿವಿ ಪ್ರಸಾರವಾಗುತ್ತಿದೆ ಎಂಬ ಬಗ್ಗೆ ದೂರು ಬಂದಿತ್ತು. ಎರಡು ಬಾರಿ ಅಲ್ಲಿಗೆ ಹೋಗಿ ಪರಿಶೀಲಿಸಲಾಗಿ ವರದಿ ನೀಡಲಾಗಿದೆ. ದೂರು ಬಂದ ತಕ್ಷಣ ‘ಕ್ಯೂ’ ಟಿವಿ ಪ್ರಸಾರ ನಿಲ್ಲಿಸಿದ್ದರು ಎಂದ ಅವರು ಕಳೆದ ಸಾಲಿನಲ್ಲಿ ಒಟ್ಟು ಮೂರು ದೂರುಗಳನ್ನು ವಿಲೇವಾರಿ ಮಾಡಲಾಗಿತ್ತು ಎಂದರು.

ಜಿಲ್ಲಾಧಿಕಾರಿಗಳು ಪ್ರತಿಕ್ರಿಯಿಸಿ ಮತ್ತೊಮ್ಮೆ ಈ ವಿಷಯವಾಗಿ ದೂರು ನೀಡಿದ ಪ್ರದೇಶಕ್ಕೆ ತೆರೆಳಿ ಪರಿಶೀಲಿಸುವಂತೆ ಸೂಚನೆ ನೀಡಿದರು.
ಸಭೆಯಲ್ಲಿ ವಾರ್ತಾಧಿಕಾರಿ ಅಶೋಕ್‍ಕುಮಾರ್.ಡಿ ಸ್ವಾಗತಿಸಿದರು. ಮಹಿಳಾ ಪದವಿ ಕಾಲೇಜಿನ ಪ್ರಾಚಾರ್ಯರಾದ ದಾದಾಪೀರ್ ನವಿಲೇಹಾಳ್, ಮನೋವೈದ್ಯ ಡಾ.ಗಂಗಂ ಸಿದ್ದು ರೆಡ್ಡಿ, ಸ್ಪೂರ್ತಿ ಮಕ್ಕಳ ಸಂಸ್ಥೆಯವರು ಹಾಜರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಭೀಕರ | ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ

Published

on

ಸುದ್ದಿದಿನ ಡೆಸ್ಕ್:ಬೆಂಗಳೂರಿನಲ್ಲಿ ಪ್ರೀತಿಯೊಂದು ರಕ್ತಸಿಕ್ತ ಅಂತ್ಯ ಕಂಡಿದೆ. ಮದುವೆಗೆ ನಿರಾಕರಿಸಿದ ಪ್ರೇಯಸಿಯನ್ನು ಪ್ರಿಯಕರನೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯ ಪೈಪ್‌ಲೈನ್ ರಸ್ತೆಯಲ್ಲಿ ನಡೆದಿದೆ.

23 ವರ್ಷದ ಅಂಜಲಿ ಕೊಲೆಯಾದ ಯುವತಿಯಾಗಿದ್ದು, ರಾಜೀವ್ ಬಂಧಿತ ಆರೋಪಿ. ಕಳೆದ ಮೂರು-ನಾಲ್ಕು ವರ್ಷಗಳಿಂದ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಈ ಹಿಂದೆ ಕೆಲಸ ಮಾಡುತ್ತಿದ್ದ ಸ್ಥಳದಲ್ಲೇ ಪರಿಚಯವಾಗಿ ಸ್ನೇಹ ಬೆಳೆದು, ಬಳಿಕ ಅದು ಪ್ರೀತಿಗೆ ತಿರುಗಿತ್ತು.

ಆದರೆ ರಾಜೀವ್‌ಗೆ ಕ್ರಿಮಿನಲ್ ಹಿನ್ನೆಲೆ ಇದ್ದ ಕಾರಣ ಅಂಜಲಿ ಕುಟುಂಬಸ್ಥರು ಈ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದರು. ಹಲವು ಬಾರಿ ಕುಟುಂಬಸ್ಥರನ್ನು ಒಪ್ಪಿಸಲು ರಾಜೀವ್ ಪ್ರಯತ್ನಿಸಿದ್ದರೂ ಫಲಿಸಿರಲಿಲ್ಲ. ಇತ್ತೀಚೆಗೆ ಪೋಷಕರ ಒತ್ತಾಯಕ್ಕೆ ಮಣಿದ ಅಂಜಲಿ ರಾಜೀವ್‌ನಿಂದ ದೂರವಾಗಲು ಆರಂಭಿಸಿದ್ದಳು. ಇಂದು ಸಂಜೆ ಅಂಜಲಿಯನ್ನು ಊಟದ ನೆಪದಲ್ಲಿ ಕರೆಸಿಕೊಂಡಿದ್ದ ರಾಜೀವ್, ಮತ್ತೊಮ್ಮೆ ಮದುವೆ ವಿಚಾರ ಪ್ರಸ್ತಾಪಿಸಿದ್ದಾನೆ. ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು, ಕೋಪಗೊಂಡ ರಾಜೀವ್ ಚಾಕುವಿನಿಂದ ಅಂಜಲಿಯ ಕುತ್ತಿಗೆಗೆ ಇರಿದಿದ್ದಾನೆ.

ರಕ್ತದ ಮಡುವಿನಲ್ಲಿ ಬಿದ್ದಿದ್ದ ಅಂಜಲಿಯನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಆಕೆ ಮೃ*ತಪಟ್ಟಿದ್ದಾಳೆ. ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಪರಿಶೀಲನೆ ನಡೆಸಿ, ಕೆಲವೇ ನಿಮಿಷಗಳಲ್ಲಿ ಆರೋಪಿ ರಾಜೀವ್‌ನನ್ನು ಬಂಧಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಿಮ್ಮ ಕಥೆಗೆ ಹೊಸ ವೇದಿಕೆ ; ಕಥೆಗಾರರಿಗೆ ಪ್ರಿಯಾ ಸುದೀಪ್‍ ಆಹ್ವಾನ

Published

on

ಸುದ್ದಿದಿನ ಡೆಸ್ಕ್:ಸುಪ್ರಿಯಾನ್ವಿ ಪ್ರೊಡಕ್ಷನ್ಸ್ ಸಂಸ್ಥೆಯಡಿ ಪ್ರಿಯಾ ಸುದೀಪ್‍ ನಿರ್ಮಿಸಿದ ಮೊದಲ ಚಿತ್ರ ‘ಮ್ಯಾಂಗೋ ಪಚ್ಚ’. ಸಂಚಿತ್‍ ಸಂಜೀವ್‍ ಅಭಿನಯದ ಈ ಚಿತ್ರ ಹೆಚ್ಚು ಸದ್ದು ಮಾಡಲಿಲ್ಲ.

ಈ ಸೋಲನ್ನು ಹಿಂದಕ್ಕೆ ಹಾಕಿ, ಪ್ರಿಯಾ ಸುದೀಪ್‍ ಇನ್ನಷ್ಟು ಹೊಸ ಕಥೆಗಳನ್ನು ತೆರೆಗೆ ತರುವುದಕ್ಕೆ, ಹೊಸ ಚಿತ್ರಗಳನ್ನು ನಿರ್ಮಿಸುವುದಕ್ಕೆ ಮುಂದಾಗಿದ್ದಾರೆ. ಕಥೆಗಾರರಿಗೆ ಆಹ್ವಾನ ನೀಡಿದ್ದಾರೆ. ‘ನಾವು ಹುಡುಕುತ್ತಿರುವುದು ಕೇವಲ ಕಥೆಗಳಲ್ಲ. ಮನಸ್ಸುಗಳನ್ನು ಮುಟ್ಟುವ ಭಾವನೆಗಳು, ಚಿಂತನೆಗೆ ಹಚ್ಚುವ ವಿಚಾರಗಳು ಮತ್ತು ಪರದೆಯ ಮೇಲೆ ಹೊಸ ಇತಿಹಾಸ ಬರೆಯುವ ಕಲ್ಪನೆಗಳು.

ನಿಮ್ಮ ಬಳಿ ಮೌಲಿಕ ಕಥೆ-ಚಿತ್ರಕಥೆ ಇದ್ದರೆ ಅಥವಾ ವಿಶಿಷ್ಟ ಕಥಾ ಪರಿಕಲ್ಪನೆ ಇದ್ದರೆ, ಅದನ್ನು ನಮ್ಮೊಂದಿಗೆ ಹಂಚಿಕೊಳ್ಳಿ. ತಮ್ಮದೇ ಆದ ವಿಶಿಷ್ಟ ದೃಷ್ಟಿಕೋನ ಮತ್ತು ಸೃಜನಾತ್ಮಕತೆಯನ್ನು ಹೊಂದಿರುವ ಲೇಖಕರು, ಕಥೆಗಾರರು ಮತ್ತು ಸೃಜನಶೀಲ ಮನಸ್ಸುಗಳನ್ನು ನಾವು ಸ್ವಾಗತಿಸುತ್ತೇವೆ. ಎಲ್ಲಾ ಪ್ರಕಾರಗಳು ಮತ್ತು ಎಲ್ಲಾ ಮಾದರಿಗಳಲ್ಲಿನ ಕಥಾ ಸಲ್ಲಿಕೆಗಳನ್ನು ನಾವು ಸ್ವಾಗತಿಸುತ್ತೇವೆ. ನಿಮ್ಮ ಕಥೆಯೇ ಮುಂದಿನ ದೊಡ್ಡ ಪ್ರಯಾಣದ ಆರಂಭವಾಗಬಹುದು’ ಎಂದು ಪ್ರಿಯಾ ಸುದೀಪ್‍, ಸೋಷಿಯಲ್‍ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ಜೊತೆಗೆ ಒಂದು ಮೊಬೈಲ್‍ ಸಂಖ್ಯೆಯನ್ನು ಸಹ ಹಂಚಿಕೊಂಡಿದ್ದಾರೆ. ಆದರೆ, ಕರೆ ಮಾಡುವಂತಿಲ್ಲ. ಚಾಟ್‍ ಮಾತ್ರ ಮಾಡಬಹುದು. ಕಥೆಗಳಿದ್ದರೆ 6663307434 ಸಂಖ್ಯೆಯನ್ನು ಸಂಪರ್ಕಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದುರಂತ | ಮೇಲ್ಛಾವಣಿ ಕುಸಿದು ಮೂವರು ಸಾವು

Published

on

ಸುದ್ದಿದಿನ,ರಾಯಚೂರು: ಕಟ್ಟಡದ ಮೇಲ್ಛಾವಣಿಯ ಸಜ್ಜಾ ಏಕಾಏಕಿ ಕುಸಿದು ಬಿದ್ದು ಮೂವರು ಯುವಕರು ಮೃತಪಟ್ಟ ದುರ್ಘಟನೆ ಭಾನುವಾರ ಜಿಲ್ಲೆಯ ದೇವದುರ್ಗ ಪಟ್ಟಣದ ಹೊಸ ಬಸ್ ನಿಲ್ದಾಣದ ಸಮೀಪ ಸಂಭವಿಸಿದೆ.

ಮೃತರನ್ನು ದೇವದುರ್ಗ ತಾಲೂಕಿನ ಸಮುದ್ರ ಗ್ರಾಮದ ರವಿಚಂದ್ರ (35), ಕ್ಯಾದಿಗೆರಾ ಗ್ರಾಮದ ನಾಗರಾಜ್ (30) ಹಾಗೂ ಕೊತ್ತಿಗುಡ್ಡದ ಅರ್ಜುನ್ (21) ಎಂದು ಗುರುತಿಸಲಾಗಿದೆ.

ಕಟ್ಟಡದ ಅವಶೇಷಗಳಡಿ ಸಿಲುಕಿ ರವಿಚಂದ್ರ ಹಾಗೂ ನಾಗರಾಜ ಸ್ಥಳದಲ್ಲೇ ಮೃತಪಟ್ಟಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಅರ್ಜುನ್‌ ಅವರನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು ಎಂದು ಪೊಲೀಸರು ತಿಳಿಸಿದ್ದಾರೆ.

ಮಾಹಿತಿಯ ಪ್ರಕಾರ, ಯುವಕರು ತಾವೇ ನಿರ್ಮಿಸಿದ್ದ ‘ಅಂತ್ಯವಾಯ್ತು’ ಎಂಬ ಕಿರುಚಿತ್ರದ ಪೋಸ್ಟರ್ ಅಂಟಿಸಲು ಕಟ್ಟಡದ ಬಳಿ ತೆರಳಿದ್ದ ವೇಳೆ ಈ ದುರಂತ ಸಂಭವಿಸಿದೆ.

ಕಟ್ಟಡದ ಮೇಲ್ಛಾವಣಿಯ ಒಂದು ಭಾಗವು, ಅದಕ್ಕೆ ಜೋಡಣೆಯಾಗಿದ್ದ ಕಬ್ಬಿಣದ ಮೆಟ್ಟಿಲುಗಳ ಸಹಿತ ಕುಸಿದು ಬಿದ್ದಿದೆ. ಘಟನೆಯಲ್ಲಿ ಉಮೇಶ್, ಪ್ರಭು ಹಾಗೂ ಅಭಿಷೇಕ್ ಎಂಬವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

ಘಟನಾ ಸ್ಥಳಕ್ಕೆ ದೇವದುರ್ಗ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆಯ ನಂತರ ನಿಖರ ಕಾರಣ ತಿಳಿಯಲಿದೆ. ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ದೇವದುರ್ಗ ಶಾಸಕಿ ಕರೆಮ್ಮ ನಾಯಕ ಭೇಟಿ ನೀಡಿ, ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending