ದಿನದ ಸುದ್ದಿ
ಜಿಲ್ಲಾ ಆಸ್ಪತ್ರೆಯಲ್ಲಿ ನಿರ್ಲಕ್ಷ್ಯ, ಭ್ರಷ್ಟಾಚಾರ ಕಂಡುಬಂದರೆ ಕ್ರಮ: ಸಚಿವ ಬಸವಂತಪ್ಪ
ಹೃದಯ ಚಿಕಿತ್ಸೆಗೆ ಹೊಸಪೇಟೆಯಲ್ಲೇ ಸೌಲಭ್ಯ; ಕ್ಯಾನ್ಸರ್ ಆಸ್ಪತ್ರೆ ಸ್ಥಾಪನೆಗೆ ಪ್ರಯತ್ನ – ಉದ್ಯೋಗ ಸೃಷ್ಟಿಗೂ ಆದ್ಯತೆ
ಸುದ್ದಿದಿನ,ಹೊಸಪೇಟೆ (ವಿಜಯನಗರ): ಸರ್ಕಾರಿ ಆಸ್ಪತ್ರೆಗಳು ಬಡವರು, ಅಸಹಾಯಕರು ಹಾಗೂ ಸಾಮಾನ್ಯ ಜನರ ಪಾಲಿಗೆ ಆರೋಗ್ಯ ಸಂಜೀವಿನಿಗಳಾಗಿವೆ. ಜಿಲ್ಲಾ ಆಸ್ಪತ್ರೆ ಸೇರಿದಂತೆ ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡುವಲ್ಲಿ ನಿರ್ಲಕ್ಷ್ಯ ಅಥವಾ ಭ್ರಷ್ಟಾಚಾರ ಕಂಡುಬಂದರೆ ವೈದ್ಯರು ಹಾಗೂ ಸಿಬ್ಬಂದಿ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮುಜರಾಯಿ, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಹಾಗೂ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಬಸವಂತಪ್ಪ ಎಚ್ಚರಿಸಿದರು.
ಹೊಸಪೇಟೆ ನಗರದ ಹೊರವಲಯದ ಜಂಬುನಾಥ ಹಳ್ಳಿ ವ್ಯಾಪ್ತಿಯಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ನಿರ್ಮಿಸಿರುವ 250 ಹಾಸಿಗೆ ಸಾಮರ್ಥ್ಯದ ನೂತನ ಜಿಲ್ಲಾ ಆಸ್ಪತ್ರೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ ನೀಡುವುದರ ಜತೆಗೆ ಸ್ವಚ್ಛತೆ, ನೈರ್ಮಲ್ಯ ಹಾಗೂ ಸಿಬ್ಬಂದಿಯ ಸೌಜನ್ಯದ ವರ್ತನೆಗೆ ಆದ್ಯತೆ ನೀಡಬೇಕು. ಆಸ್ಪತ್ರೆಗೆ ಬರುವ ರೋಗಿಗಳ ನೋವಿಗೆ ತಕ್ಷಣ ಸ್ಪಂದಿಸಿ, ಸೇವಾ ಮನೋಭಾವದಿಂದ ಕರ್ತವ್ಯ ನಿರ್ವಹಿಸಿದಾಗ ಆಸ್ಪತ್ರೆ ನಿರ್ಮಾಣದ ಉದ್ದೇಶ ಸಾರ್ಥಕವಾಗಲಿದೆ ಎಂದರು.
ವಿಜಯನಗರ ಹೊಸ ಜಿಲ್ಲೆಯಾಗಿದ್ದು, ಜಿಲ್ಲೆಯ ಸಾರ್ವಜನಿಕರ ಆರೋಗ್ಯ ಸುಧಾರಣೆಗೆ ರಾಜ್ಯ ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದೆ. ಸುಮಾರು 104 ಕೋಟಿ ರೂ. ವೆಚ್ಚದಲ್ಲಿ ಸುಂದರವಾಗಿ ಹಾಗೂ ಅತ್ಯಾಧುನಿಕ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸುವ ಉದ್ದೇಶದಿಂದ ಜಿಲ್ಲಾ ಆಸ್ಪತ್ರೆಯನ್ನು ನಿರ್ಮಿಸಲಾಗಿದೆ. ಹೊರರೋಗಿ ವಿಭಾಗ, ಶಸ್ತ್ರಚಿಕಿತ್ಸಾ ವಿಭಾಗ, ಔಷಧಾಲಯ ಸೇರಿದಂತೆ 17ಕ್ಕೂ ಹೆಚ್ಚು ವಿಭಾಗಗಳು ಇಲ್ಲಿ ಆರಂಭವಾಗಿವೆ. ಮೊದಲ ಹಂತದಲ್ಲಿ ಈಗಾಗಲೇ 90 ಸಿಬ್ಬಂದಿಯನ್ನು ಪೂರ್ಣಾವಧಿಗೆ ನೇಮಕ ಮಾಡಲಾಗಿದೆ. ಎರಡನೇ ಹಂತದಲ್ಲಿ ಉಳಿದ ಅಗತ್ಯ ವೈದ್ಯರು ಹಾಗೂ ಶುಶ್ರೂಷಕ ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳಲು ಸರ್ಕಾರದ ಅನುಮೋದನೆ ಪಡೆಯುವ ನಿಟ್ಟಿನಲ್ಲಿ ಪ್ರಸ್ತಾವನೆ ಸಲ್ಲಿಸಿ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಜಿಲ್ಲಾ ಆಸ್ಪತ್ರೆಯಲ್ಲಿ ರಕ್ತ ಪರೀಕ್ಷೆ, ಎಕ್ಸ್ರೇ, ಎಂಆರ್ಐ, ಶವಾಗಾರ ಸೇರಿದಂತೆ ಸಾರ್ವಜನಿಕರಿಗೆ ಅಗತ್ಯವಿರುವ ಪ್ರಮುಖ ವೈದ್ಯಕೀಯ ಸೌಲಭ್ಯಗಳು ಸಮರ್ಪಕವಾಗಿ ಲಭ್ಯವಾಗಬೇಕು. ಕೇಂದ್ರಿಕೃತ ಪ್ರಯೋಗಾಲಯ ಸ್ಥಾಪಿಸುವ ಅಗತ್ಯವಿದ್ದು, ಜಿಲ್ಲಾಡಳಿತ ಸೂಕ್ತ ಪ್ರಸ್ತಾವನೆ ಸಲ್ಲಿಸಿದರೆ ಪರಿಶೀಲಿಸಿ, ಜಿಲ್ಲೆಯ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿ ಹಾಗೂ ಸರ್ಕಾರದ ಅನುದಾನದ ಮೂಲಕ ಪ್ರಯೋಗಾಲಯ ಆರಂಭಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಹೃದಯ ಸಂಬಂಧಿ ಕಾಯಿಲೆಗಳಿಗೆ ಚಿಕಿತ್ಸೆ ಹಾಗೂ ಶಸ್ತ್ರಚಿಕಿತ್ಸೆ ಪಡೆಯಲು ಮಣಿಪಾಲ, ಬಳ್ಳಾರಿ, ದಾವಣಗೆರೆ ಸೇರಿದಂತೆ ದೂರದ ನಗರಗಳಿಗೆ ತೆರಳುವ ಅನಿವಾರ್ಯತೆ ತಪ್ಪಿಸಲು ಹೊಸಪೇಟೆಯಲ್ಲಿಯೇ ಅಗತ್ಯ ಉಪಕರಣಗಳು ಹಾಗೂ ಹೃದಯ ಶಸ್ತ್ರಚಿಕಿತ್ಸಾ ಸೌಲಭ್ಯ ಕಲ್ಪಿಸಲು ಪ್ರಯತ್ನಿಸಲಾಗುತ್ತಿದೆ. ಜಿಲ್ಲೆಯ ಭೌಗೋಳಿಕ ಹಿನ್ನೆಲೆ ಹಾಗೂ ಗಣಿಗಾರಿಕೆ ಪ್ರದೇಶವಾಗಿರುವುದರಿಂದ ಕಾರ್ಮಿಕರು ಸೇರಿದಂತೆ ಜನರಲ್ಲಿ ಶ್ವಾಸಕೋಶ ಹಾಗೂ ಇತರ ಆರೋಗ್ಯ ಸಮಸ್ಯೆಗಳು ಎದುರಾಗುವ ಸಾಧ್ಯತೆ ಇದೆ. ಹೀಗಾಗಿ ಜಿಲ್ಲೆಯ ಜನಪ್ರತಿನಿಧಿಗಳ ಸಹಕಾರದೊಂದಿಗೆ ಹೊಸಪೇಟೆಯಲ್ಲಿ ಶೀಘ್ರ ಕ್ಯಾನ್ಸರ್ ಆಸ್ಪತ್ರೆ ಆರಂಭಿಸಲು ಪ್ರಯತ್ನಿಸಲಾಗುತ್ತಿದ್ದು, ಇದರಿಂದ ವಿಜಯನಗರ ಮತ್ತು ಬಳ್ಳಾರಿ ಜಿಲ್ಲೆಯ ಜನರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದರು.
ಜಿಲ್ಲೆಯ ಜನರ ಬೇಡಿಕೆಗೆ ಅನುಗುಣವಾಗಿ ಸೂಕ್ತ ಸ್ಥಳದಲ್ಲಿ ಸಕ್ಕರೆ ಕಾರ್ಖಾನೆ ಆರಂಭಿಸಲು ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡಲಿದೆ. ಜನರಿಗೆ ಅಗತ್ಯ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ. ಜಿಲ್ಲೆಯ ಅಭಿವೃದ್ಧಿಗೆ ಜನಪ್ರತಿನಿಧಿಗಳ ಪ್ರಯತ್ನದ ಜತೆಗೆ ಸಾರ್ವಜನಿಕರ ಸಹಕಾರವೂ ಮುಖ್ಯವಾಗಿದೆ. ಜನರ ಆಶೀರ್ವಾದದಿಂದ ಜಿಲ್ಲೆಯಲ್ಲಿ ಆರೋಗ್ಯ, ಉದ್ಯೋಗ ಹಾಗೂ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಸಚಿವ ಯು.ಟಿ. ಖಾದರ್ ಮಾತನಾಡಿ, ಸುಮಾರು 104 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಜಿಲ್ಲಾ ಆಸ್ಪತ್ರೆಯ ವೈದ್ಯಕೀಯ ಸೇವೆಗಳಿಗೆ ಅಗತ್ಯವಿರುವ ವೈದ್ಯರು, ವೈದ್ಯಕೀಯ ಸಿಬ್ಬಂದಿ ನೇಮಕಾತಿ ಸೇರಿದಂತೆ ಎಲ್ಲ ಆಡಳಿತಾತ್ಮಕ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದ ಬಳಿಕ ಮುಂದಿನ ಮೂರರಿಂದ ಮೂರೂವರೆ ತಿಂಗಳೊಳಗೆ ಆಸ್ಪತ್ರೆಯನ್ನು ಪೂರ್ಣ ಪ್ರಮಾಣದಲ್ಲಿ ಸಾರ್ವಜನಿಕ ಸೇವೆಗೆ ಮುಕ್ತಗೊಳಿಸಲಾಗುವುದು ಎಂದು ತಿಳಿಸಿದರು.
ರಾಜ್ಯದ ಸರ್ಕಾರಿ ಜಿಲ್ಲಾ ಆಸ್ಪತ್ರೆಗಳ ಪೈಕಿ ಅತ್ಯುತ್ತಮ ಕಟ್ಟಡಗಳಲ್ಲಿ ವಿಜಯನಗರ ಜಿಲ್ಲಾ ಆಸ್ಪತ್ರೆಯೂ ಒಂದಾಗಿದೆ. ಕಟ್ಟಡ ಉದ್ಘಾಟನೆಯಾಗಿದ್ದರೂ, ವೈದ್ಯಕೀಯ ಉಪಕರಣಗಳ ಸ್ಥಳಾಂತರ ಹಾಗೂ ಅಗತ್ಯ ಸಿಬ್ಬಂದಿ ನೇಮಕ ಪ್ರಕ್ರಿಯೆ ಪೂರ್ಣಗೊಳ್ಳಬೇಕಿರುವುದರಿಂದ ಸಾರ್ವಜನಿಕ ಸೇವೆಗೆ ಪೂರ್ಣ ಪ್ರಮಾಣದಲ್ಲಿ ಸಜ್ಜಾಗಲು ಸುಮಾರು ಮೂರು ತಿಂಗಳು ಕಾಲಾವಕಾಶ ಬೇಕಾಗುತ್ತದೆ.
ಜಿಲ್ಲೆಯ ಭವಿಷ್ಯದ ದೃಷ್ಟಿಯಿಂದ ಸುಮಾರು 53 ಎಕರೆ ಪ್ರದೇಶದಲ್ಲಿ ವ್ಯವಸ್ಥೆ ರೂಪಿಸಲಾಗಿದ್ದು, ಮುಂದಿನ ದಿನಗಳಲ್ಲಿ ಆಯುರ್ವೇದ ಆಸ್ಪತ್ರೆ, ಕ್ಯಾನ್ಸರ್ ಘಟಕ, ನರ್ಸಿಂಗ್, ಪ್ಯಾರಾಮೆಡಿಕಲ್ ಕಾಲೇಜು ಹಾಗೂ ವೈದ್ಯಕೀಯ ಕಾಲೇಜು ಸೇರಿದಂತೆ ವಿವಿಧ ಸೌಲಭ್ಯಗಳು ಬರುವ ನಿರೀಕ್ಷೆಯಿದೆ. ಸದ್ಯ ತಾಲೂಕು ಆಸ್ಪತ್ರೆ ಎಂದಿನಂತೆ ಕಾರ್ಯನಿರ್ವಹಿಸಲಿದ್ದು, ಸಣ್ಣಪುಟ್ಟ ತಪಾಸಣೆಗಳಿಗೆ ಜನರು ಅನಗತ್ಯವಾಗಿ ದೂರದ ಆಸ್ಪತ್ರೆಗೆ ಅಲೆಯುವುದು ತಪ್ಪಲಿದೆ ಎಂದು ಹೇಳಿದರು.
ನಕಲಿ ವೈದ್ಯರ ಹಾವಳಿ ಹಾಗೂ ಆಡಳಿತಾತ್ಮಕ ಕ್ರಮ
ನಕಲಿ ವೈದ್ಯರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದ್ದು, ಕಾನೂನು ಬದಲಾವಣೆ ಹಾಗೂ ಕಠಿಣ ಶಿಕ್ಷೆಯ ಕುರಿತೂ ಕ್ರಮ ಕೈಗೊಳ್ಳಲಾಗುತ್ತಿದೆ. ಜಿಲ್ಲೆಯಲ್ಲಿ ಎದುರಾಗಿರುವ ವಿವಿಧ ಸಮಸ್ಯೆಗಳ ಪರಿಹಾರಕ್ಕೆ ವಿಶೇಷ ಕ್ಯಾಬಿನೆಟ್ ಸಭೆ ನಡೆಸುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಶಿಕ್ಷಣ ಹಾಗೂ ವಸತಿ ಯೋಜನೆಗಳು: ಈ ಶೈಕ್ಷಣಿಕ ವರ್ಷದಲ್ಲಿ ಹೊಸ ಶಾಲೆಗಳು, ಹಾಸ್ಟೆಲ್ಗಳು ಹಾಗೂ ವೃತ್ತಿಪರ ಕಾಲೇಜುಗಳ ಆರಂಭಕ್ಕೆ ಮಂಜೂರಾತಿ ನೀಡಲಾಗಿದ್ದು, ವಿದ್ಯಾರ್ಥಿಗಳಿಗೆ ಹೆಚ್ಚಿನ ಅವಕಾಶ ಕಲ್ಪಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಬಳ್ಳಾರಿ ಸಂಸದ ಈ. ತುಕಾರಾಂ, ಕೂಡ್ಲಿಗಿ ಶಾಸಕ ಡಾ.ಎನ್.ಟಿ. ಶ್ರೀನಿವಾಸ, ಹೊಸಪೇಟೆ ಶಾಸಕ ಹೆಚ್.ಆರ್. ಗವಿಯಪ್ಪ, ನಗರಸಭೆ ಅಧ್ಯಕ್ಷ ರೂಪೇಶ ಕುಮಾರ ಎನ್., ಜಿಲ್ಲಾಧಿಕಾರಿ ಕವಿತಾ ಮನ್ನಿಕೇರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್. ಜಾಹ್ನವಿ, ಅಪರ ಜಿಲ್ಲಾಧಿಕಾರಿ ಲೋಕೇಶ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಲ್.ಆರ್. ಶಂಕರ ನಾಯ್ಕ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಲಿಂಗರಾಜು ಟಿ. ಸೇರಿದಂತೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.