ದಿನದ ಸುದ್ದಿ
ನಟ ದರ್ಶನ್‌ಗೆ ರಾಜಾತಿಥ್ಯ ; ಏಳು ಮಂದಿ ಜೈಲು ಅಧಿಕಾರಿ, ಸಿಬ್ಬಂದಿ ಅಮಾನತು
ಸುದ್ದಿದಿನಡೆಸ್ಕ್:ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್‌ಗೆ ರಾಜಾತಿಥ್ಯ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಏಳುಮಂದಿ ಜೈಲು ಅಧಿಕಾರಿ, ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದರು.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೈಲರ್ ಶರಣಬಸವ ಅಮೀನಗಢ, ಸಹಾಯಕ ಜೈಲರ್ ಪುಟ್ಟಸ್ವಾಮಿ, ಜೈಲ್ ಹೆಡ್ ವಾರ್ಡರ್‌ಗಳಾದ ವೆಂಕಪ್ಪ, ಸಂಪತ್, ವಾರ್ಡರ್‌ಗಳಾದ ಬಸಪ್ಪ, ಪ್ರಭು, ಶ್ರೀಕಾಂತ್ ಅವರನ್ನು ಅಮಾನತು ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ಘಟನೆ ಹಿನ್ನೆಲೆಯಲ್ಲಿ ಹಿರಿಯ ಅಧಿಕಾರಿಗಳ ವಿರುದ್ಧವೂ ಸಹ ತನಿಖೆ ನಡೆಯುತ್ತಿದೆ. ಮುಂದೆ ಇಂತಹ ಘಟನೆಗಳು ನಡೆಯದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ತಿಳಿಸಿದರು.
ಇನ್ನೊಂದೆಡೆ, ಜೈಲಿನಲ್ಲಿ ನಟ ದರ್ಶನ್ ಹಾಗೂ ಮತ್ತಿತರರಿಗೆ ರಾಜಾತಿಥ್ಯ ಒದಗಿಸುತ್ತಿರುವ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ದರ್ಶನ್ ಮತ್ತು ಇತರರನ್ನು ಕೂಡಲೇ ಬೇರೆ ಬೇರೆ ಕಾರಾಗೃಹಗಳಿಗೆ ಸ್ಥಳಾಂತರ ಮಾಡುವಂತೆ ನಿರ್ದೇಶಿಸಿದ್ದಾರೆ. ಅಲ್ಲದೆ, ಪ್ರಕರಣದ ಬಗ್ಗೆ ಸಂಪೂರ್ಣ ವರದಿ ನೀಡುವಂತೆ ಅವರು ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಸೂಚಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243