ದಿನದ ಸುದ್ದಿ
ಅಖಿಲ ಭಾರತ 84 ನೇ ಕನ್ನಡ ಸಾಹಿತ್ಯ ಸಮೇಳನಕ್ಕೆ ಭಾರೀ ಸಿದ್ಧತೆ..!
ಸುದ್ದಿದಿನ, ಧಾರವಾಡ : ಜನೇವರಿ 4, 5ಮತ್ತು 6 ರಂದು ಧಾರವಾಡ ಕೃಷಿ ವಿಶ್ವವಿದ್ಯಾಲದ ಆವರಣದಲ್ಲಿ ಆಯೋಜಿಸುತ್ತಿರುವ ಅಖಿಲ ಭಾರತ 84ನೇ ಕನ್ನಡ ಸಾಹಿತ್ಯ ಸಮ್ಮೇಳನದ ಮುಖ್ಯ ವೇದಿಕೆ, ಪ್ರತಿನಿಧಿಗಳ ನೊಂದಣಿ ಕೇಂದ್ರ, ಪುಸ್ತಕ ಮಳಿಗೆ, ಊಟದ ಪೆಂಡಾಲ ನಿರ್ಮಿಸುವ ಸ್ಥಳಗಳಿಗೆ ಇಂದು ಮಧ್ಯಾಹ್ನ ಭೇಟಿ ನೀಡಿದ್ದ, ಕಂದಾಯ ಮತ್ತು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜಿವನೋಪಾಯ ಸಚಿವರು ಮತ್ತು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಆರ್.ವ್ಹಿ.ದೇಶಪಾಂಡೆ ಅವರು ಸಮ್ಮೇಳನ ಸಿದ್ಧತೆಗಗಳನ್ನು ಪರಿಶೀಲಿಸಿದರು.
ಮುಖ್ಯ ವೇದಿಕೆ ನಿರ್ಮಾಣ ಸ್ಥಳಕ್ಕೆ ಭೇಟಿ ನೀಡಿದ ಸಚಿವರು, ವೇದಿಕೆಯಲ್ಲಿ ಆಸಿನರಾಗುವ ಗಣ್ಯರ ಹೆಸರುಗಳನ್ನು ಮುಂಚಿತವಾಗಿ ಜಿಲ್ಲಾಡಳಿತಕ್ಕೆ ನೀಡುವಂತೆ ಕಸಾಪ ಪದಾಧಿಕಾರಿಗಳಿಗೆ ಸೂಚಿಸಿದರು.
ವೇದಿಕೆ ಅಲಂಕಾರ, ವೇದಿಕೆ ಸುತ್ತ ಮತ್ತು ಸಮ್ಮೇಳನದ ಸ್ಥಳದಲ್ಲಿ ಸ್ವಚ್ಚತೆ, ಧ್ವನಿವರ್ಧಕ ಅಳವಡಿಕೆ, ಕುಡಿಯುವ ನೀರು, ತಾತ್ಕಾಲಿಕ ಶೌಚಾಲಯಗಳ ಸೌಲಭ್ಯದ ಕುರಿತು ಅಧಿಕಾರಿಗಳಿಂದ ಸಚಿವರು ಮಾಹಿತಿ ಪಡೆದರು.
ಜಿಲ್ಲಾಧಿಕಾರಿ ದೀಪಾ ಚೋಳನ ಅವರು ಮಾತನಾಡಿ, ಮುಖ್ಯ ವೇದಿಕೆಯಲ್ಲಿ ಸುಮಾರು 50 ಸಾವಿರ ಜನರಿಗೆ ಆಸನ ವ್ಯವಸ್ಥೆ ಮಾಡಲಾಗುತ್ತಿದೆ. ಸ್ಥಳದಲ್ಲಿ ಅಗತ್ಯ ಸೌಲಭ್ಯಗಳನ್ನು ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಹೇಳಿದರು.ಸಮ್ಮೇಳನಕ್ಕೆ ಆಗಮಿಸುವ ಜನರಿಗೆ ತೊಂದರೆ ಆಗದಂತೆ ರಸ್ತೆ ಕೆಲಸ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಚಿವರು ತಿಳಿಸಿದರು.
ಸಾಹಿತ್ಯ ಸಮ್ಮೇಳನ ಜನರ ಉತ್ಸವವಾಗಿ ನಡೆಯಬೇಕು. ಸರಕಾರ ಸಾಹಿತ್ಯ ಸಮ್ಮೇಳನಕ್ಕೆ ೮ ಕೋಟಿ ಅನುದಾನ ನೀಡಿದೆ. ಹೆಚ್ಚಿನ ಅನುದಾನ ಅಗತ್ಯವೆನಿಸಿದರೆ ಪರಿಶೀಲಿಸಿ ಸರಕಾರದಿಂದ ಬಿಡುಗಡೆ ಮಾಡಲು ಕ್ರಮಕೈಕೊಳ್ಳಲಾಗುವುದು. ಯಾವೂದೇ ರೀತಿಯಿಂದ ಅನವಶ್ಯಕ ವೆಚ್ಚವಾಗದಂತೆ ಜವಾಬ್ದಾರಿ ವಹಿಸಬೇಕಿದೆ. ಕೈಗಾರಿಕೆ, ಕಾರ್ಖಾನೆ, ಉದ್ಯಮಿಗಳು ಸ್ವಯಂ ಪ್ರೇರಣೆಯಿಂದ ದೇಣಿಗೆ ನೀಡಿದರೆ ಸ್ವೀಕರಿಸಲಾಗುವುದು. ಯಾವುದೇ ರೀತಿಯ ಒತ್ತಾಯವಿಲ್ಲ ಎಂದು ಸಚಿವರು ತಿಳಿಸಿದರು.
ಪ್ರತಿನಿಧಿಗಳ ನೊಂದಣಿ ಕೇಂದ್ರಕ್ಕೆ ಭೇಟಿ ನೀಡಿದ ಸಚಿವರು, ಪೆಂಡಾಲ ನಿರ್ಮಾಣದ ಜೊತೆಗೆ ಅಲ್ಲಿನ ಕಟ್ಟಡಗಳಿಗೂ ಸುಣ್ಣ, ಬಣ್ಣದೊಂದಿಗೆ ಶೃಂಗಾರಗೊಳಿಸಲು ಅಧಿಕಾರಿಗಳಿಗೆ ಸೂಚಿಸಿದರು. ಜನವರಿ 4ರ ಬೆಳಿಗ್ಗೆ 8 ಗಂಟೆಗೆ ರಾಷ್ಟçಧ್ವಜಾರೋಹನ, ನಾಡಧ್ವಜಾರೋಹನ ಮತ್ತು ಪರಿಷತ್ತ ಧ್ವಜಾರೋಹನ ನೇರವೆರುತ್ತದೆ. ನಂತರ 8:30ಕ್ಕೆ ಕರ್ನಾಟಕ ಕಾಲೇಜು ಆವರಣದಿಂದ ಸಮ್ಮೇಳನಾಧ್ಯಕ್ಷರ ಮೆರವಣಿಗೆ ಆರಂಭವಾಗಿ 11 ಗಂಟೆಗೆ ಸಮ್ಮೇಳನದ ಮುಖ್ಯ ವೇದಿಕೆ ಇರುವ ಕೃಷಿ ವಿಶ್ವವಿದ್ಯಾಲಯದ ಕ್ರೀಡಾಂಗಣಕ್ಕೆ ಬಂದು ತಲುಪುತ್ತದೆ. ನಂತರ 84ನೇ ಸಾಹಿತ್ಯ ಸಮ್ಮೇಳನವನ್ನು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಉದ್ಘಾಟಿಸಲಿದ್ದಾರೆ. ಸಮ್ಮೇಳನ ಮೂರು ದಿನಗಳ ಕಾಲ ಮುಖ್ಯ ವೇದಿಕೆ ಮತ್ತು ಎರಡು ಸಮನಾಂತರ ವೇದಕೆಗಳಲ್ಲಿ ಅರ್ಥಪೂರ್ಣವಾದ ವಿಚಾರಗೋಷ್ಠಿ, ಕವಿಗೋಷ್ಠಿ, ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸ್ಥಳೀಯ ಕಲಾವಿದರಿಗೆ ಅಧ್ಯತೆ ನೀಡವಂತೆ ಸೂಚಿಸಲಾಗಿದೆ.
ವಾಣಿಜ್ಯ ಮತ್ತು ಪುಸ್ತಕ ಮಳಿಗೆಗಳಲ್ಲಿ ಭಾಗವಹಿಸಲಿರುವ ಸರ್ಕಾರಿ ಇಲಾಖೆಯಡಿ ರಚನೆಗೊಂಡಿದರುವ ಮಹಿಳಾ ಸ್ವಸಹಾಯ ಗುಂಪುಗಳಿಗೆ ಅವರ ಉತ್ಪಾದಕತೆಗಳನ್ನು ಪ್ರದರ್ಶಿಸಲು ಮತ್ತು ಮಾರಾಟಕ್ಕೆ ಅನುಕೂಲವಾಗುವಂತೆ ಸುಮಾರು40 ಮಳಿಗೆಗಳನ್ನು ಉಚಿತವಾಗಿ ನೀಡಲಾಗುತ್ತಿದೆ ಸಮ್ಮೇಳನದಲ್ಲಿ ಭಾಗವಹಿಸುವ ಮಹಿಳೆಯರ ಸುರಕ್ಷತೆಗೆ ಹೆಚ್ಚಿನ ಆಧ್ಯತೆ ನೀಡುವಂತೆ ಸಂಬಂಧಿತ ಪೊಲೀಸ ಹಾಗೂ ಇತರ ಇಲಾಖೆಗಳಿಗೆ ತಿಳಿಸಲಾಗಿದೆ ಎಂದು ಸಚಿವರು ಹೇಳಿದರು.
ಸಾಹಿತ್ಯ, ಸಾಂಸ್ಕೃತಿಕ ತವರೂರಾಗಿರುವ ಧಾರವಾಡದಲ್ಲಿ ನಡೆಯುತ್ತಿರುವ ಈ ಸಮ್ಮೇಳನ ಅರ್ಥ ಪೂರ್ಣವಾಗಿ ಯಶಸ್ವಿಯಾಗಲು ಜಿಲ್ಲಾಧಿಕಾರಿಗಳ ನೇತೃತ್ವದ ಅಧಿಕಾರಿಗಳ ತಂಡ ಮತ್ತು ಜಿಲ್ಲಾ ಕಸಾಪ ಪ್ರತಿನಿಧಿಗಳು ಸಾಕಷ್ಟು ಸಿದ್ಧತೆ ಮಾಡಿಕೊಂಡಿದ್ದು, ತಮಗೆ ಖುಷಿ ತಂದಿದೆ. ಎಲ್ಲರೂ ಸೇರಿ ಸಮ್ಮೇಳನ ಯಶಸ್ವಿಗೊಳಿಸೋಣ ಎಂದು ಸಚಿವರು ತಿಳಿಸಿದರು.
ಈ ಸಂದರ್ಭದಲ್ಲಿ ಶಾಸಕರಾದ ಅರವಿಂದ ಬೆಲ್ಲದ, ಪ್ರಸಾದ ಅಬ್ಬಯ್ಯ, ಮಹಾಪೌರ ಸುಧೀರ ಸರಾಫ, ಜಿಲ್ಲಾಧಿಕಾರಿ ದೀಪಾ ಚೋಳನ, ನಗರ ಪೊಲೀಸ್ ಆಯುಕ್ತ ಎಂ.ಎನ್.ನಾಗರಾಜ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂಗೀತಾ ಜಿ, ಸಾರ್ವಜನಿಕ ಶಿಕ್ಷಣ ಇಲಾಖೆ ಅಪರ ಆಯುಕ್ತ ಸಿದ್ಧಲಿಂಗಯ್ಯ ಹಿರೇಮಠ, ಮಹಾನಗರ ಪಾಲಿಕೆ ಆಯುಕ್ತ ಶಕೀಲ್ ಅಹ್ಮದ, ಜಿಲ್ಲಾ ಕಸಾಪ ಅಧ್ಯಕ್ಷ ಲಿಂಗರಾಜ ಅಂಗಡಿ ಸೇರಿದಂತೆ ವಿವಿಧ ಸಮಿತಿಗಳ ಅಧ್ಯಕ್ಷರು, ಕಾರ್ಯಾಧ್ಯಕ್ಷರು ಹಾಗೂ ಅಧಿಕಾರಿಗಳು, ಜಿಲ್ಲಾ ಕಸಾಪ ಪದಾಧಿಕಾರಿಗಳು, ಗುತ್ತಿಗೆದಾರರು, ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ದಾವಣಗೆರೆ | 18 ನೇ ವಾರ್ಡ್ ನಲ್ಲಿ ಕೈ ಅಭ್ಯರ್ಥಿ ಸಮರ್ಥ ಶಾಮನೂರು ಪ್ರಚಾರ
ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಸಮರ್ಥ್ ಶಾಮನೂರು ಅವರು ಮಂಗಳವಾರ 18 ನೇ ವಾರ್ಡ್ ವ್ಯಾಪ್ತಿಯಲ್ಲಿ ಅಬ್ಬರ ಪ್ರಚಾರ ನಡೆಸಿದರು.
ನಗರದ ಬಾರ್ ಲೈನ್ ದರ್ಗಕ್ಕೆ ತೆರಳಿ ಚಾದರ ಅರ್ಪಿಸಿದ ಸಮರ್ಥ ಶಾಮನೂರು ಅವರಿಗೆ ಮುಸ್ಲಿಂ ಸಮಾಜದ ಬಾಂಧವರು ಆತ್ಮೀಯವಾಗಿ ಸನ್ಮಾನಿಸಿದರು. ಬಳಿಕ ಅಲ್ಲಿಂದ ಪ್ರಚಾರವನ್ನು ಆರಂಭಿಸಿದ ಅವರು ಎಂ.ಬಿ ಕೇರಿ, ಮಟನ್ ಮಾರ್ಕೇಟ್, ಗಡಿಯಾರ ಕಂಬ, ಸ್ವಾಗೇರ್ ಪೇಟೆ, ಹೊಂಡದ ರಸ್ತೆ, ಕಾಯಿಪೇಟೆಯ ಮನೆ ಮನೆಗೆ ತೆರಳಿ ಮತಯಾಚಿಸಿದರು.
ಕಾಂಗ್ರೆಸ್ ಪಕ್ಷದ ಮುಖಂಡರಾದ ನರಸಿಂಹಪ್ಪ, ರವಿಕುಮಾರ್, ಕಾಶಿನಾಥ್ ಅವರ ಮನೆಗೆ ಅಭ್ಯರ್ಥಿ ಸಮರ್ಥ ಶಾಮನುರು ಅವರು ಭೇಟಿ ನೀಡಿದಾಕ್ಷಣ ಕುಟುಂಬಸ್ಥರು ದಿವಂಗತರಾದ ಡಾ.ಶಾಮನೂರು ಶಿವಶಂಕರಪ್ಪ ಅವರನ್ನು ನೆನೆದು ಭಾವುಕರಾದರು. ಶಾಮನೂರು ಸಮರ್ಥ ಅವರಿಗೆ ದಕ್ಷಿಣ ಕ್ಷೇತ್ರದಲ್ಲಿ ಪ್ರಚಂಡ ಬಹುಮತವನ್ನು ನೀಡಿ ಗೆಲ್ಲಿಸುತ್ತೇವೆ ಎಂದು ಮತದಾರರು ಅಭಿಪ್ರಾಯ ವ್ಯಕ್ತಪಡಿಸಿದರು.
ಸ್ಥಳೀಯ ಮುಖಂಡರಾದ ಚಂದ್ರ ಶೇಖರ್, ಸೋಗಿ ಶಾಂತಕುಮಾರ್, ಪ್ರವೀಣ್ ರಾವ್, ಬಕ್ಕೇಶ್, ಪರಮೇಶ್, ಜಯರಾಜ್, ಹನುಮಂತ್, ರಾಘವೇಂದ್ರ, ಭೀಮಣ್ಣ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಕರ್ನಾಟಕ ಜಾಹೀರಾತು ನೀತಿಗೆ ಸಂಪಾದಕರ ವಿರೋಧ ; ಸಿಎಂಗೆ ಮನವಿ
ನೀತಿಯನ್ನು ಪರಿಶೀಲಿಸುವ ಭರವಸೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಸುದ್ದಿದಿನ,ದಾವಣಗೆರೆ: ಕರ್ನಾಟಕ ಜಾಹೀರಾತು ನೀತಿ-2026 ರಲ್ಲಿ ಪತ್ರಿಕೆಗಳಿಗೆ ಮಾರಕವಾದ ನಿಯಮಗಳನ್ನು ಕೈಬಿಡುವಂತೆ ಕೋರಿ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ದಾವಣಗೆರೆ ಜಿಲ್ಲಾ ವರದಿಗಾರರ ಕೂಟದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸೋಮವಾರ ಮಧ್ಯಾಹ್ನ ನಗರದ ಎಂ.ಬಿ.ಎ ಗ್ರೌಂಡ್ ಹೆಲಿಪ್ಯಾಡ್ ನಲ್ಲಿ ಮನವಿ ಸಲ್ಲಿಸಲಾಯಿತು.
ರಾಜ್ಯದಲ್ಲಿ ಜಾರಿಗೆ ತರಲು ಹೊರಟಿರುವ ಕರ್ನಾಟಕ ಜಾಹೀರಾತು ನೀತಿ-2026 ಜಿಲ್ಲಾ ಮಟ್ಟದ ಮತ್ತು ಪ್ರಾದೇಶಿಕ ಮಟ್ಟದ ಪತ್ರಿಕೆಗಳಿಗೆ ಮಾರಕವಾಗಿದ್ದು,ಇದರಿಂದ ಶತಶತಮಾನಗಳಿಂದ ಸಮಾಜದ ಮತ್ತು ಸರ್ಕಾರದ ಕೊಂಡಿಯಾಗಿ ಸೇವೆ ಮಾಡುತ್ತಿರುವ ಪತ್ರಿಕೆಗಳು ಮುಚ್ಚುತ್ತವೆ. ಯಾವುದೇ ಕಾರಣಕ್ಕೂ ಪತ್ರಿಕೆಗಳಿಗೆ ಮಾರಕವಾಗುವ ನಿಯಮಗಳನ್ನು ಅಳವಡಿಸದೇ ಪತ್ರಿಕೆಗಳ ಏಳಿಗೆಗೆ ಪೂರಕವಾದ ಅಂಶಗಳನ್ನು ಸೇರಿಸಿ ಕರ್ನಾಟಕ ಜಾಹೀರಾತು ನೀತಿಯನ್ನು ಜಾರಿಗೆ ತರಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ , ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರಿಗೆ ಮನವರಿಕೆ ಮಾಡಿಕೊಡಲಾಯಿತು.
ಸಂಘಗಳ ಮನವಿ ಸ್ವೀಕರಿಸಿದ ಮುಖ್ಯಮಂತ್ರಿಗಳು ಜಾಹೀರಾತು ನೀತಿ ಪರಿಶೀಲಿಸುವ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘದ ರಾಜ್ಯಾಧ್ಯಕ್ಷರಾದ ಎ.ಸಿ.ತಿಪ್ಪೇಸ್ವಾಮಿ, ಜಿಲ್ಲಾ ಘಟಕದ ಅಧ್ಯಕ್ಷರಾದ ಸುರೇಶ್ ಆರ್ ಕುಣೆಬೆಳಕೆರೆ, ಖಜಾಂಜಿ ಶಿವಮೂರ್ತಿ ಟಿ.ಜಿ , ರಾಜ್ಯ ಸಂಘದ ನಾಮನಿರ್ದೇಶನ ಸದಸ್ಯ ಕೆ.ಜೈಮುನಿ ಮತ್ತು
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಅಧ್ಯಕರಾದ ಇ.ಎಂ.ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಬದ್ರಿನಾಥ್, ಖಜಾಂಚಿ ಜೆ.ಎಸ್.ವೀರೇಶ್ ಹಾಗೂ ದಾವಣಗೆರೆ ಜಿಲ್ಲಾ ವರದಿಗಾರರ ಕೂಟದ ಅಧ್ಯಕ್ಷರಾದ ನಾಗರಾಜ ಬಡದಾಳ್ , ಹಿರಿಯ ಪತ್ರಕರ್ತರಾದ ಕೆ.ಏಕಾಂತಮ್ಮ, ಬಿ.ಎನ್.ಮಲ್ಲೇಶ್, ಮಲ್ಲಿಕಾರ್ಜುನ ಕಬ್ಬೂರು, ಆರ್.ಎಸ್.ತಿಪ್ಪೇಸ್ವಾಮಿ, ಕೊಟ್ರೇಶ್ ಅಣಬೂರುಮಠ, ನಿಂಗಪ್ಪ, ಗೋವಿಂದ ರಾಜು, ಫಕೃದ್ದೀನ್, ಆರ್.ರವಿ,ಬಿ.ವಾಸುದೇವ, ರಾಘವೇಂದ್ರ ರಾವ್, ವೇದಮೂರ್ತಿ,ನಿಂಗಪ್ಪ, ಪರಶುರಾಮ, ನಂದಕುಮಾರ್ ಮುಂತಾದವರು ಇದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಹರಿಹರ ನಗರಸಭೆಯು 04 ಸಂಖ್ಯಾತಿರಿಕ್ತ ಪೌರಕಾರ್ಮಿಕರ ಹುದ್ದೆಗಳನ್ನು ವಿಶೇಷ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಪ್ರಸ್ತುತ ಹರಿಹರ ನಗರಸಭೆಯಲ್ಲಿ ಕೆಲಸ ನಿರ್ವಹಿಸುತ್ತಿರುವವರು ಹಾಗೂ ಈ ನಿಯಮ ಜಾರಿಗೆ ಬಂದ ದಿನಾಂಕದಲ್ಲಿಯೂ ಸದರಿ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಮಾರ್ಚ್ 11 ರಿಂದ ಅರ್ಜಿಗಳನ್ನು ಪಡೆದುಕೊಳ್ಳಬಹುದು.
ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಏಪ್ರಿಲ್ 10 ಕಡೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಅರ್ಜಿಗಳನ್ನು ಹರಿಹರ ನಗರಸಭೆ ಕಚೇರಿಯಿಂದ ಮಾತ್ರ ಪಡೆದುಕೊಳ್ಳಬೇಕು. ಹುದ್ದೆಗಳ ವರ್ಗೀಕರಣ, ಷರತ್ತುಗಳು, ವಯೋಮಿತಿ ಮತ್ತು ಅಗತ್ಯ ಅರ್ಹತೆಗಳ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಕಚೇರಿ ಸಮಯದಲ್ಲಿ ಹರಿಹರ ನಗರಸಭೆ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ದಾವಣಗೆರೆಯ ಜಿಲ್ಲಾಧಿಕಾರಿಗಳು ಹಾಗೂ ಆಯ್ಕೆ ಮತ್ತು ನೇರ ನೇಮಕಾತಿ ಪ್ರಾಧಿಕಾರದ ಅಧ್ಯಕ್ಷರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243


