ದಿನದ ಸುದ್ದಿ
ಅಂಬೇಡ್ಕರ್ ಜಯಂತಿ ಪ್ರಯುಕ್ತ ಪ್ರಬಂಧ ಸ್ಪರ್ಧೆ
ಸುದ್ದಿದಿನ,ಬೆಂಗಳೂರು: ವಿಶ್ವಜ್ಞಾನಿ, ಭಾರತರತ್ನ, ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ 130ನೇ ಜನ್ಮದಿನದ ಪ್ರಯುಕ್ತ ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಲಾಗಿದೆ.
ಸ್ಪರ್ಧೆಯಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ಮತ್ತು ಸಂಶೋಧಕರು, “ಅಂಬೇಡ್ಕರ್ ಜೀವನ-ಸಾಧನೆಯಿಂದ ನಾವು ಕಲಿಯಬೇಕಾದುದೇನು?” ಎಂಬ ವಿಷಯದ ಕುರಿತು ಪ್ರಬಂಧವನ್ನು ಬರೆಯಬೇಕು.
ಆಯ್ಕೆಯಾದವರಿಗೆ, ಪ್ರಮಾಣ ಪತ್ರ ಮತ್ತು ಪ್ರಥಮ ಬಹುಮಾನ ರೂ. 3000, ದ್ವಿತೀಯ ಬಹುಮಾನ ರೂ. 2000, ತೃತೀಯ ಬಹುಮಾನ ರೂ.1000 ಮತ್ತು ಉತ್ತೇಜನ ಬಹುಮಾನ ರೂ. 500 ನೀಡಲಾಗುವುದು ಎಂದು ಬೆಂಗಳೂರು ದಲಿತ್ ಫೋರಂ ಪ್ರಕಟಣೆಯಲ್ಲಿ ತಿಳಿಸಿದೆ.
ಬೆಂಗಳೂರು ದಲಿತ್ ಫೋರಮ್ (ಬಿಡಿಎಫ್) ಎಂಬುದು ನಮ್ಮ ಸಂಸ್ಥೆ, ವಿಶ್ವಜ್ಞಾನಿ, ಭಾರತರತ್ನ, ಬಾಬಾಸಾಹೇಬ್ ಡಾ. ಬಿ.ಆರ್.ಅಂಬೇಡ್ಕರ್ ಅವರ ಚಿಂತನೆ ಮತ್ತು ಬೋಧನೆಯಿಂದ ನಮ್ಮ ಸಂಸ್ಥೆ ಸ್ಫೂರ್ತಿ ಪಡೆದುಕೊಂಡಿದೆ. ಈ ಚಿಂತನೆಯನ್ನು ವಿಶೇಷವಾಗಿ ವಿದ್ಯಾರ್ಥಿ-ಯುವಜನರಿಗೆ ತಲುಪಿಸುವುದಕ್ಕೆ ನಮ್ಮ ಸಂಸ್ಥೆ ತನ್ನನ್ನು ಅರ್ಪಿಸಿಕೊಂಡಿದೆ, ಹಾಗೆಯೆ, ದಲಿತ ಸಮುದಾಯಕ್ಕೆ ಸಂಬಂಧಿಸಿದ ವಿಭಿನ್ನ ವಿಷಯಗಳನ್ನು ಅರಿತುಕೊಳ್ಳಲು, ಅಧ್ಯಯನ ಮಾಡಲು ಮತ್ತು ವಿಶ್ಲೇಷಣೆ ಮಾಡಲು 5 ವರ್ಷಗಳಿಂದ ನಮ್ಮ ಸಂಸ್ಥೆ ಕೆಲಸ ಮಾಡುತ್ತಿದೆ.
ವಿದ್ಯಾರ್ಥಿ-ಯುವಜನರೊಂದಿಗೆ ಸಂವಾದ, ವಿಚಾರ ವಿನಿಮಯ, ಪ್ರಶ್ನೋತ್ತರದಂಥ ಅನೇಕ ಕಾರ್ಯಕ್ರಮಗಳನ್ನು ಬಿಡಿಎಫ್ ಇದುವರೆಗೆ ಹಮ್ಮಿಕೊಂಡು ಬಂದಿದೆ.
ಬಿಡಿಎಫ್ ಇದುವರೆಗೆ ಅನೇಕ ಕಿರುಪುಸ್ತಕಗಳನ್ನು ವಿದ್ಯಾರ್ಥಿ ಯುವಜನರಿಗೆ ಉಚಿತವಾಗಿ ನೀಡಿದೆ. ಡಾ. ಅಂಬೇಡ್ಕರ್ ಅವರು ಸಂವಿಧಾನದ ಕರಡು ಪ್ರತಿಯನ್ನು ಸಂವಿಧಾನ ರಚನಾ ಸಭೆಗೆ ಸಲ್ಲಿಸಿದ ನಂತರ ಮಾಡಿದ ಭಾಷಣದ ಕನ್ನಡ ಅನುವಾದದ 2000 ಪ್ರತಿಗಳನ್ನು ಕೂಡ ವಿದ್ಯಾರ್ಥಿಗಳಿಗೆ ಮತ್ತು ಯುವಜನರಿಗೆ ತಲುಪಿಸಿದೆ.
2019ರ ‘ಸಂವಿಧಾನ ಜಾರಿಗೊಂಡ ದಿನ’ ಅಂದರೆ ಜನವರಿ 26ರಂದು ಬೆಂಗಳೂರಿನ ಹತ್ತು ಮೆಟ್ರೋ ರೇಲ್ವೆ ನಿಲ್ದಾಣಗಳಲ್ಲಿ ಒಂದು ಗಂಟೆ ಕಾಲ ‘ಎಕ್ಸಿಟ್’ ಗೇಟ್ ಬಳಿ ನಿಂತು, ಮೆಟ್ರೋ ಪ್ರಯಾಣ ಮುಗಿಸಿಕೊಂಡು ತೆರಳುತ್ತಿದ್ದ 8000 ಮಂದಿ ಪ್ರಯಾಣಿಕರಿಗೆ ‘ಸಂವಿಧಾನದ ಪೀಠಿಕೆ’ ಕಾರ್ಡ್ಗಳನ್ನು ನೀಡಲಾಗಿದೆ.
ನಗರಮತ್ತು ಗ್ರಾಮೀಣ ಪ್ರದೇಶದ ನೂರಾರು ಕಾಲೇಜು ಗಳಿಗೆ ಈ ಕಾರ್ಡ್ಗಳನ್ನು ವಿತರಿಸಲಾಗಿದೆ. ಒಂದು ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿ (ಶಾಲೆ/ಕಾಲೇಜು)ಗಳ ಜೊತೆ ಸಂವಾದ ನಡೆಸಲಾಗಿದೆ.
ಈಗ, ಡಾ. ಅಂಬೇಡ್ಕರ್ ಅವರ ಜನ್ಮ ದಿನಾಚರಣೆ ಪ್ರಯುಕ್ತ, ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಲ್ಲಿನ ವಿವಿಧ ವಿಭಾಗಗಳ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಪ್ರಬಂಧ ಸ್ಪರ್ಧೆ ಏರ್ಪಡಿಸಲು ಬಿಡಿಎಫ್ ಆಶಿಸಿದೆ. ಇದರಲ್ಲಿ ಹೆಚ್ಚಿನ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಭಾಗವಹಿಸಬೇಕೆಂದು ಕೋರಲಾಗಿದೆ.
ನಿಬಂಧನೆಗಳು
1. ಪ್ರಬಂಧವು ಕನ್ನಡ ಅಥವಾ ಇಂಗ್ಲೀಷ್ ಭಾಷೆಯಲ್ಲಿ 2000 – 3000 ಪದಗಳ ಒಳಗೆ ಇರಬೇಕು. ಕನ್ನಡ ಪ್ರಬಂಧವನ್ನು ಸಾಫ್ಟ್ ಕಾಪಿ ಕಳಿಸುವುದಾದರೆ, ಪ್ರಬಂಧವು ನುಡಿ ತಂತ್ರಾಂಶದಲ್ಲಿ ಇರಬೇಕು
2. ಪ್ರಬಂಧವನ್ನು ಈಮೇಲ್ ಮೂಲಕ ಅಥವಾ ರಿಜಿಸ್ಟರ್ಡ್ ಅಂಚೆ ಮೂಲಕ ಕಳಿಸಬಹುದು.
3. ಪ್ರಬಂಧದಲ್ಲಿ ಉಲ್ಲೇಖಗಳಿಗೆ, ಉದೃ ಭಾಗಗಳಿಗೆ ಅವಕಾಶ ಇದೆ; ಆದರೆ, ಕೃತಿಚೌರ್ಯಕ್ಕೆ ಅವಕಾಶ ಇಲ್ಲ.
4. ಪ್ರಬಂಧಕ್ಕೆ ಪುಟಸಂಖ್ಯೆಗಳನ್ನು ಹಾಕಿರಬೇಕು.
5. ಸ್ನಾತಕೋತ್ತರ ಅಥವಾ ಸಂಶೋಧನಾ ವಿದ್ಯಾರ್ಥಿ-ವಿದ್ಯಾರ್ಥಿನಿ ಆಗಿರುವ ಬಗ್ಗೆ ವಿಭಾಗ ಮುಖ್ಯಸ್ಥರಿಂದ/ಮಾರ್ಗದರ್ಶಕ ಪ್ರಾಧ್ಯಾಪಕರಿಂದ ಧೃಡೀಕರಣ ಪ್ರಮಾಣಪತ್ರವನ್ನು ಲಗತ್ತಿಸಿರಬೇಕು.
6. ಸ್ವೀಕರಿಸಿದ ಪ್ರಬಂಧಗಳನ್ನು ಹಿಂತಿರುಗಿಸಲಾಗುವುದಿಲ್ಲ.
7. ಈ ಎಲ್ಲಾ ಪ್ರಬಂಧಗಳನ್ನು ಪುಸ್ತಕದ ರೂಪದಲ್ಲಿ ಪ್ರಕಟಿಸುವ ಹಕ್ಕು ಬಿಡಿಎಫ್ ಬಳಿ ಇರುತ್ತದೆ.
8. ಪ್ರಬಂಧಗಳನ್ನು ಸ್ವೀಕರಿಸಲು ಕಡೇ ದಿನಾಂಕ 13 ಏಪ್ರಿಲ್ 2021 ರಾತ್ರಿ 8ಗಂಟೆವರೆಗೆ
ಪ್ರಬಂಧ ಕಳಿಸಬೇಕಾದ ವಿಳಾಸ
ಬೆಂಗಳೂರು ದಲಿತ್ ಫೋರಮ್, ಫ್ಲಾಟ್ ನಂಬರ್ 229, ರೇಡಿಯಂಟ್ ಕರೇಲ್ ಅಪಾರ್ಟ್ಮೆಂಟ್, ನಾಯಂಡಹಳ್ಳಿ, ಬೆಂಗಳೂರು-560 069 ಮೊಬೈಲ್ ನಂಬರ್ 9880412233, ಇಮೇಲ್: bdftim@gmail.com
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ದೇವನಗರಿ ಸುದ್ದಿದಿನ – ದೀಪಾವಳಿ ವಿಶೇಷ ಸಂಚಿಕೆ 2026 : ಕತಾ ಸ್ಪರ್ಧೆ ; ಅನಂತ ಕುಣಿಗಲ್ ಅವರ ಸಂಸ ಕತೆ ಪಡೆದ ಪ್ರಥಮ ಸ್ಥಾನ ಅಮಾನ್ಯ ; ಪರಿಷ್ಕೃತ ಫಲಿತಾಂಶ ಪ್ರಕಟ
ಸುದ್ದಿದಿನ,ದಾವಣಗೆರೆ:ದೇವನಗರಿ ಸುದ್ದಿದಿನ – ದೀಪಾವಳಿ ವಿಶೇಷ ಸಂಚಿಕೆ 2026ರ ಕತಾ ಸ್ಪರ್ಧೆಯ ನಿಯಮಾವಳಿಯನ್ನು ಉಲಂಘಿಸಿರುವ ಕಾರಣ ಅನಂತ ಕುಣಿಗಲ್ ಅವರ ಸಂಸ ಕತೆ ಪಡೆದ ಪ್ರಥಮ ಸ್ಥಾನವನ್ನು ಅಮಾನ್ಯ ಮಾಡಲಾಗಿದೆ ಎಂದು ಪತ್ರಿಕೆಯ ಸಂಪಾದಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕತೆ-ಕವಿತೆ ಸ್ಪರ್ಧೆಯ ನಿಯಮಾವಳಿಗಳ ಪ್ರಕಾರ ‘ “ಸ್ವತಂತ್ರ ರಚನೆಯಾಗಿರ ಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು” ಎನ್ನುವ ನಿಯಮಾವಳಿಗಳನ್ನು ಉಲಂಘಿಸಿರುವುದರಿಂದ ಪ್ರಥಮ ಸ್ಥಾನ ಪಡೆದ ” ಸಂಸ” ಕತೆಯನ್ನು ಅಮಾನ್ಯಗೊಳಿಸಲಾಗಿದೆ.
‘ಸಂಸ’ ಕತೆಯ ಕತೆಗಾರರಾದ ಅನಂತ ಕುಣಿಗಲ್ ಅವರು
ಸ್ವತಃ ತಮ್ಮ ಫೇಸ್ ಬುಕ್ ವಾಲ್ ನಲ್ಲಿ ‘ ಸಂಸ’ ಕತೆಯು ಈ ಹಿಂದೆ ಯಾವುದೋ ಕತಾ ಸ್ಪರ್ಧೆಯಲ್ಲಿ ಸಮಾಧಾನಕರ ಬಹುಮಾನ ಪಡೆದಿತ್ತು. ಮತ್ತೊಂದೆಡೆ ತೃತೀಯ, ಮಗದೊಂದೆಡೆ ದ್ವಿತೀಯ ಬಹುಮಾನ ಲಭಿಸಿತ್ತು, ಅಲ್ಲದೆ ‘ಟೋಟೋ’ ಅವಾರ್ಡ್ ನ ಅಂತಿಮ ಸುತ್ತಿಗೆ ಎರಡು ಬಾರಿ ಶಾರ್ಟ್ ಲಿಸ್ಟ್ ಆಗಿತ್ತು ಎಂದು ಬರೆದು ಕೊಂಡಿರುತ್ತಾರೆ. ಆದಕಾರಣ ಈ ಕ್ರಮವನ್ನು ಕೈಗೊಳ್ಳಲಾಗಿದೆ.
ಕತಾ ಸ್ಪರ್ಧೆಯ ಪರಿಷ್ಕೃತ ಫಲಿತಾಂಶ
ಕತಾ ಸ್ಪರ್ಧೆಯಲ್ಲಿ ರವಿಮುಡೋಡಿ ಅವರ ʼಅರ್ಧ ರೇಖೆಯ ಚಿತ್ರʼ ಕತೆಗೆ ಪ್ರಥಮ ಬಹುಮಾನ, ವಿಜಯ ಶ್ರೀ ಹಾಲಾಡಿ ಅವರ ʼಮಳೆಹಾಡುʼ ಕತೆಗೆ ದ್ವಿತೀಯ ಬಹುಮಾನ ಹಾಗೂ ಅಜೇಯ ಸಿಂಹ ಕೆ.ವಿ ಅವರ ‘ ಮಾರ್ಜಕದ ಶ್ರೀಮುಡಿ’ ಕತೆಗೆ ತೃತೀಯ ಬಹುಮಾನ ದೊರೆತಿದೆ ಎಂದು ಸುದ್ದಿದಿನ ಪತ್ರಿಕೆ ಸಂಪಾದಕ ಮಾಹಿತಿ ನೀಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದೇವನಗರಿ ಸುದ್ದಿದಿನ ಪತ್ರಿಕೆಯ ದೀಪಾವಳಿ ವಿಶೇಷಾಂಕ- 2026 ರ ಕತೆ – ಕವಿತೆ ಫಲಿತಾಂಶ ಪ್ರಕಟ
ಸುದ್ದಿದಿನ,ದಾವಣಗೆರೆ:ದೇವನಗರಿ ಸುದ್ದಿದಿನ ಹಾಗೂ ಶ್ಯಾಮ್ ಪ್ರಕಾಶನ, ನವಿಲೇಹಾಳು ವತಿಯಿಂದ ದೀಪಾವಳಿ ವಿಶೇಷಾಂಕ-2026 ರ ಕತೆ ಮತ್ತು ಕವಿತೆ ಸ್ಪರ್ಧೆಯ ಫಲಿತಾಂಶ ಪ್ರಕಟವಾಗಿದ್ದು, ಕತಾ ಸ್ಪರ್ಧೆಯಲ್ಲಿ ಅನಂತ್ ಕುಣಿಗಲ್ ಅವರ ́ಸಂಸʼ ಕತೆಗೆ ಪ್ರಥಮ ಬಹುಮಾನ,. ರವಿ ಮಡೋಡಿ ಅವರ ʼಅರ್ಧ ರೇಖೆಯ ಚಿತ್ರʼ ಕತೆಗೆ ದ್ವಿತೀಯ ಬಹುಮಾನ ಹಾಗೂ ವಿಜಯ ಶ್ರೀ ಹಾಲಾಡಿ ಅವರ ʼಮಳೆಹಾಡುʼ ಕತೆಗೆ ತೃತೀಯ ಬಹುಮಾನ ದೊರೆತಿದೆ ಎಂದು ಸುದ್ದಿದಿನ ಪತ್ರಿಕೆ ಸಂಪಾದಕರಾದ ಗೋವರ್ಧನ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಜೇಯ ಸಿಂಹ ಕೆ.ವಿ. ಅವರ ʼಮಾರ್ಜಕದ ಶ್ರೀಮುಡಿʼ, ಟಿ.ಆರ್. ಪ್ರಕಾಶ ಭಾಗವತ ಅವರ ʼಸಮಾಧಿʼ , ರಘುನಂದನ್ ಅವರ ʼಹೀಗೊಂದು ಕಛೇರಿʼ , ಡಾ||. ಮಿರ್ಜಾ ಬಷೀರ್ ಅವರ ʼ ಒಂದು ಸದ್ದಿಲ್ಲದ ಕ್ರಾಂತಿʼ, ಸುಜಾತ ಎಸ್. ಎನ್ ರೆಡ್ಡಿ ಅವರ ʼ ಸತ್ಯ ದರ್ಶನʼ, ಚಂದ್ರಿಕಾ ನಾಗರಾಜ್ ಹಿರಿಯಡಕ ಅವರ ʼ ವೆಂಕಟನ ಸ್ವೆಟರ್, ರೈಹಾನ ಅವರ ʼಬಾವಿಗೆ ಬಿದ್ದರೂʼ, ಒಟ್ಟು ಈ ಏಳುಕತೆಗಳು ತೀರ್ಪುಗಾರ ಮೆಚ್ಚುಗೆ ಪಡೆದಿವೆ.
ಕತಾ ಸ್ಪರ್ಧೆಯ ತೀರ್ಪುಗಾರರಾಗಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಕತೆಗಾರ ಹಾಗೂ ನಿವೃತ್ತ ಪ್ರಾಧ್ಯಾಪಕ ಅಮರೇಶ ನುಗಡೋಣಿ, ಹೊಸಪೇಟೆ, ಕವಿ ಕತೆಗಾರ , ಜಿ. ಮುದ್ದುವೀರಸ್ವಾಮಿ, ದಾವಣಗೆರೆ, ಕತೆಗಾರ್ತಿ ಹಾಗೂ ಕನ್ನಡ ಪ್ರಾಧ್ಯಾಪಕಿ, ಸುಜಾತ ಚಲಾವಾದಿ, ತಾಳಿಕೋಟೆ, ಕತೆಗಾರ ಹಾಗೂ ಅಕ್ಷರ ಸಂಗಾತ ಮಾಸ ಪತ್ರಿಕೆಯ ಸಂಪಾದಕ ಡಾ. ಟಿ ಎಸ್. ಗೊರವರ, ಗಜೇಂದ್ರಘಡ ಇವರು ಕಾರ್ಯನಿವಹಿದ್ದರು ಎಂದು ಮಾಹಿತಿ ನೀಡಿದ್ಧಾರೆ.
ಪ್ರಥಮ ಬಹುಮಾನ ಹತ್ತು ಸಾವಿರ ರೂ (10000 ರೂ ) ನಗದು, ದ್ವೀತೀಯ ಬಹುಮಾನ ಐದು ಸಾವಿರ ನಗದು, (5000 ರೂ), ತೃತೀಯ ಬಹುಮಾನ ಮೂರು ಸಾವಿರ (3000) ರೂ ನಗದು ಹಾಗೂ ಪ್ರಮಾಣ ಪತ್ರವನ್ನು ಬಹುಮಾನಿತರಿಗೆ ನೀಡಲಾಗುವುದು.
ಕವಿತೆ ಸ್ಪರ್ಧೆ ಫಲಿತಾಂಶ
ಕವಿತೆ ಸ್ಪರ್ಧೆಯಲ್ಲಿ ಆನಂದ ಕುಂಚನೂರ ಅವರ ʼ ಬೆತ್ತಲೆ ಶಿಖರʼ ಕವಿತೆಗೆ ಪ್ರಥಮ ಬಹುಮಾನ, ಅಜಯ್ ಅಂಗಡಿ ಅವರ ʼಒಂದು ಶ್ರಾವಣ ಸಂಜೆಗೆʼ ದ್ವಿತೀಯ ಬಹುಮಾನ, ಭಾಗ್ಯ ಜ್ಯೋತಿ ಹಿರೇಮಠ ಅವರ ʼ ಗೋಡೆ ಕವಿತೆಗೆ ತೃತೀಯ ಬಹುಮಾನ ದೊರೆತಿದೆ.
ಫೈಜ್ನಟ್ರಾಜ್ ಅವರ ʼಅವ್ವ ತಟ್ಟಿದ ರೊಟ್ಟಿಯಲ್ಲಿ ಬೆರಳಿನ ಗುರುತುʼ, ಹೊನ್ನಪ್ಪ. ನೀ. ಕರೆಕನ್ನಮ್ಮನವರ ಅವರ ʼಒಂಟಿಯಾನದ ಸರಕುʼ, ಕವಿತ ಎ.ವಿ ಅವರ ʼಬಂದಿದ್ದಾರೆ ಸಿಕ್ಕಿಲ್ಲʼ, ರಮ್ಯ ಕೆ.ಜಿ. ಅವರ ʼಬಿಡಿಸಿಕೊಳ್ಳುತ್ತದೊಂದು ಚಿತ್ರ,ʼ, ಮುರ್ತುಜಾ ಬೇಗಂ ಕೊಡಗಲಿ ಅವರ ʼಒಂದು ಕನ್ನಡಿ ಮೂರು ಬಿಂಬಗಳುʼ, ಮನಸ್ವಿ ಎಂ ಸ್ವಾಮಿ ಅವರ ʼ ರಾಜಧಾನಿಯಲ್ಲಿ ರಾಜʼ, ವೀಣಾ ರಾವ್ ಅವರ ʼಬಣ್ಣಗಳ ಆಚೆಗೆʼ ಒಟ್ಟು ಏಳು ಕವಿತೆಗಳು ತೀರ್ಪುಗಾರರ ಮೆಚ್ಚುಗೆ ಪಡೆದಿವೆ.
ಕವಿತೆ ಸ್ಪರ್ಧೆಯ ತೀರ್ಪುಗಾರರಾಗಿ ಕವಿ ಚಂದ್ರಶೇಖರ ತಾಳ್ಯ, ಹೊಳಲ್ಕೆರೆ, ಕವಯಿತ್ರಿ ಸವಿತಾ ನಾಗಭೂಷಣ, ಶಿವಮೊಗ್ಗ, ಕವಿ ವಿಲ್ಸನ್ ಕಟೀಲು ಅವರು ಕಾರ್ಯನಿರ್ವಹಿಸಿದ್ದರು.
ಪ್ರಥಮ ಬಹುಮಾನ ಐದು ಸಾವಿರ ರೂ (5000 ರೂ ) ನಗದು, ದ್ವೀತೀಯ ಬಹುಮಾನ ಮೂರು ಸಾವಿರ ನಗದು, (3000 ರೂ), ತೃತೀಯ ಬಹುಮಾನ ಎರಡು ಸಾವಿರ (2000) ರೂ ನಗದು ಹಾಗೂ ಪ್ರಮಾಣ ಪತ್ರವನ್ನು ಬಹುಮಾನಿತರಿಗೆ ಇದೇ ಅಕ್ಟೋಬರ್ 24 ರಂದು ದಾವಣಗೆರೆಯ ಕುವೆಂಪು ಕನ್ನಡ ಭವನದಲ್ಲಿ ʼ ನಡೆಯುವ ದೀಪಾವಳಿ ವಿಶೇಷಾಂಕ-2026 ರ ಬಿಡುಗಡೆ ಕಾರ್ಯಕ್ರಮದಲ್ಲಿ ನೀಡಿ ಗೌರವಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ: 9980346243 ಸಂಪರ್ಕಿಸಲು ಈ ಮೂಲಕ ತಿಳಿಸಲಾಗಿದೆ.

ದಿನದ ಸುದ್ದಿ
ನನ್ನ ನೆಚ್ಚಿನ ಪುಸ್ತಕ ವಿಮರ್ಶೆ ಸ್ಪರ್ಧೆ ; ವಿದ್ಯಾರ್ಥಿಗಳಿಗೆ ಬಹುಮಾನ
ಸುದ್ದಿದಿನ,ದಾವಣಗೆರೆ:ಪೂಜ್ಯ ಡಾ|| ಸದ್ಯೋಜಾತ ಶಿವಾಚಾರ್ಯ ಮಹಾಸ್ವಾಮಿಗಳವರ ಸ್ಮರಣಾರ್ಥ ಹಾಗೂ ಶಿಕ್ಷಕರ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ದಾವಣಗೆರೆ ಜಿಲ್ಲಾ ಮಟ್ಟದ “ನನ್ನ ನೆಚ್ಚಿನ ಪುಸ್ತಕ” ವಿಮರ್ಶೆ ಸ್ಪರ್ಧೆಯಲ್ಲಿ ಜಿಲ್ಲೆಯ ಹಲವಾರು ಪ್ರೌಢಶಾಲೆಯ ಮಕ್ಕಳು ಭಾಗವಹಿಸಿದ್ದರು.
ತೀರ್ಪುಗಾರರ ಮೆಚ್ಚುಗೆ ಪಡೆದ ಸಿದ್ಧಗಂಗಾ ಸಂಸ್ಥೆಯ ನಯಾಸ ಡಿ.ಎಸ್. ಪ್ರಥಮ ಬಹುಮಾನವಾಗಿ ಒಂದು ಸಾವಿರ, ದ್ವಿತೀಯ ಬಹುಮಾನ ಗಳಿಸಿದ ಜಾಹ್ನವಿ ರೂ. 750 ಮತ್ತು ತೃತೀಯ ಬಹುಮಾನ ಗಳಿಸಿದ ಚೈತನ್ಯ ವಿ. ಎಸ್. ರೂ. 500 ನಗದು ಬಹುಮಾನ ಪಡೆದರು. ಜೊತೆಗೆ ಈ ಮಕ್ಕಳಿಗೆ ಆಯೋಜಕರು ಸ್ಮರಣಿಕೆ, ಪ್ರಶಸ್ತಿಪತ್ರ ನೀಡಿ ಶಾಲು ಹೊದಿಸಿ ಸನ್ಮಾನಿಸಿದರು. ಎಳೆಯರ ಪ್ರಬುದ್ಧತೆಯನ್ನು ಶ್ಲಾಘಿಸಿದರು.
ಸಿದ್ಧಗಂಗಾ ವಿದ್ಯಾಸಂಸ್ಥೆಯ ಮುಖ್ಯಸ್ಥೆ ಜಸ್ಟಿನ್ ಡಿಸೌಜ ಅವರು ವಿಜೇತ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ವಿದ್ಯಾರ್ಥಿಗಳ ನಿರಂತರ ಪರಿಶ್ರಮ, ಶಿಕ್ಷಕರ ಮಾರ್ಗದರ್ಶನ ಪಾಲಕರ ಪ್ರೋತ್ಸಾಹ ಈ ಯಶಸ್ಸಿಗೆ ಕಾರಣವಾಗಿದೆ ಎಂದರು.
ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಪಠ್ಯಪುಸ್ತಕಗಳ ಜೊತೆಗೆ ಉತ್ತಮ ಕಾದಂಬರಿಗಳು, ಕಥಾಸಂಕಲನಗಳು, ಸಾಧಕರ ಆತ್ಮಕಥೆ ಕುರಿತಾದ ಪುಸ್ತಕಗಳನ್ನು ಓದುವ ಹವ್ಯಾಸ ಅತ್ಯಂತ ಮಹತ್ವದ್ದು, ಓದಿನ ಮೂಲಕ ಜ್ಞಾನ ವೃದ್ಧಿಯಾಗುವುದರ ಜೊತೆಗೆ ಚಿಂತನೆ, ವಿಶ್ಲೇಷಣೆ ಮತ್ತು ಅಭಿವ್ಯಕ್ತಿ ಸಾಮರ್ಥ್ಯವೂ ವೃದ್ಧಿಯಾಗುತ್ತದೆ. ವಿದ್ಯಾರ್ಥಿಗಳು ಮುಂದೆಯೂ ಇಂತಹ ಸಾಹಿತ್ಯಿಕ ಚಟುವಟಿಕೆಗಳಲ್ಲಿ ಸಕ್ರೀಯವಾಗಿ ಪಾಲ್ಗೊಂಡು ಹೆಚ್ಚಿನ ಸಾಧನೆ ಮಾಡಬೇಕು ಎಂದು ಶುಭ ಹಾರೈಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243


