Connect with us

ದಿನದ ಸುದ್ದಿ

ಜಿಎಸ್ ಟಿ ಪರಿಹಾರದಲ್ಲಿ ರಾಜ್ಯಕ್ಕೆ ಅಂದಾಜು 27 ಸಾವಿರ ಕೋಟಿ ಖೋತಾ ಆಗಬಹುದು : ಸಿದ್ದರಾಮಯ್ಯ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ಬೆಂಗಳೂರು : ರಾಜ್ಯಕ್ಕೆ ಭೇಟಿ ನೀಡಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಯುಪಿಎ ಸರ್ಕಾರದ ಹತ್ತು ವರ್ಷಗಳಲ್ಲಿ ಕರ್ನಾಟಕಕ್ಕೆ ನೀಡಿದ್ದ ಕೊಡುಗೆ ಏನು ಎಂದು ಪ್ರಶ್ನಿಸಿದ್ದಾರೆ. ಯುಪಿಎಗಿಂತ ತಮ್ಮ ಸರ್ಕಾರ ಕರ್ನಾಟಕಕ್ಕೆ ಹೆಚ್ಚಿನ ಅನುದಾನ ನೀಡಿದೆ ಎಂದು ಒಂದಷ್ಟು ಸುಳ್ಳು ಅಂಕಿ-ಅಂಶಗಳನ್ನು ಮುಂದಿಟ್ಟು ಹೇಳಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಕಿಡಿಕಾರಿದರು.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ವ್ಯಾಪಾರದಲ್ಲಿ ನುರಿತ ಗುಜರಾತಿಗಳು ಲೆಕ್ಕದಲ್ಲಿ ಪಕ್ಕಾ ಎನ್ನುವ ಅಭಿಪ್ರಾಯ ಇದೆ. ಆದರೆ ಆ ರಾಜ್ಯದವರಾದ ಪ್ರಧಾನಿ ಮತ್ತು ಗೃಹಸಚಿವರು ಬಾಯಿಬಿಟ್ಟರೆ ಸುಳ್ಳು ಲೆಕ್ಕಗಳೇ ಉದುರುತ್ತವೆ. ಗೃಹಸಚಿವ ಅಮಿತ್ ಶಾ ಅವರು ಮತ್ತೊಮ್ಮೆ ಸುಳ್ಳುಗಳ ಮೂಟೆ ಉರುಳಿಸಿಹೋಗಿದ್ದಾರೆ. ಈಗ ನಾನು ಹೇಳುವ ಲೆಕ್ಕವನ್ನು ಅವರು ಗಮನವಿಟ್ಟು ಕೇಳಬೇಕು ಮತ್ತು ತಾಳ್ಮೆಯಿಂದ ಉತ್ತರ ಕೊಡಬೇಕು.

ಮೊದಲನೆಯದಾಗಿ ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡುವ ದುಡ್ಡು ಭಿಕ್ಷೆ ಅಲ್ಲ, ಅದು ನ್ಯಾಯಬದ್ದವಾಗಿ ನಮಗೆ ಸಿಗಬೇಕಾಗಿರುವ ಪಾಲು. ಕರ್ನಾಟಕ ಪ್ರತಿವರ್ಷ ಅಂದಾಜು 2,20,000 ಕೋಟಿ ರೂಪಾಯಿಯಷ್ಟು ತೆರಿಗೆ-ಸುಂಕ ಮೂಲಕ ಕೇಂದ್ರ ಸರ್ಕಾರಕ್ಕೆ ನೀಡುತ್ತದೆ. ಅದರಲ್ಲಿ ಹಣಕಾಸು ಆಯೋಗದ ಶಿಫಾರಸಿನ ಸೂತ್ರದಂತೆ ಆ ತೆರಿಗೆ ಹಣದಲ್ಲಿ ಶೇಕಡಾ 42ರಷ್ಟು ಹಣವನ್ನು ಕೇಂದ್ರ ಸರ್ಕಾರ ನಮ್ಮ ರಾಜ್ಯಕ್ಕೆ ಹಿಂದಿರುಗಿ ಕೊಡಬೇಕು. ಆದರೆ ಬಿಜೆಪಿ ಆಡಳಿತದ ಕಾಲದಲ್ಲಿ ನಮಗೆಂದೂ ಶೇಕಡಾ 42ರಷ್ಟು ಪಾಲು ಸಿಕ್ಕಿಲ್ಲ ಎಂದರು.

ಯುಪಿಎ ಆಡಳಿತದ ಕಾಲದಲ್ಲಿ (2010/11- 2013/14) ಹಣಕಾಸು ಆಯೋಗ ಕರ್ನಾಟಕಕ್ಕೆ ಕೇಂದ್ರ ತೆರಿಗೆಗಳ ಪಾಲು ನಿಗದಿಪಡಿಸಿದ್ದು ರೂ.45, 713 ಕೋಟಿ, ನಾವು ಪಡೆದದ್ದು ರೂ.47,036 ಕೋಟಿ. ಇದು ನಿಗದಿಪಡಿಸಿದ್ದಕ್ಕಿಂತ ರೂ.1.323 ಕೋಟಿ (ಶೇಕಡಾ 2.9ರಷ್ಟು) ಹೆಚ್ಚು. ಬಿಜೆಪಿ ಆಡಳಿತದ ಕಾಲದಲ್ಲಿ (2014-15 2019-20) 13 ಮತ್ತು 14ನೇ ಹಣಕಾಸು ಆಯೋಗ ಕರ್ನಾಟಕಕ್ಕೆ ನಿಗದಿಪಡಿಸಿದ್ದ ತೆರಿಗೆ ಪಾಲು ರೂ.2,03,039 ಕೋಟಿ, ಸಿಕ್ಕಿದ್ದು ಕೇವಲ ರೂ.1,65 963 ಕೋಟಿ ರೂಪಾಯಿ ಮಾತ್ರ, ಅಂದರೆ ರೂ.48,768 ಕೋಟಿ (ಶೇಕಡಾ 18.2ರಷ್ಟು) ಕಡಿಮೆ.

2019-20ರ ವರ್ಷಕ್ಕೆ ಕರ್ನಾಟಕಕ್ಕೆ ಹಣಕಾಸು ಆಯೋಗ ನಿಗದಿಪಡಿಸಿದ್ದ ತೆರಿಗೆ ಪಾಲು ರೂ.48, 768 ಕೋಟಿ, ನಮಗೆ ಸಿಕ್ಕಿರುವುದು ರೂ.30.919 ಕೋಟಿ ಮಾತ್ರ. ಇದರ ಜೊತೆಗೆ ಹತ್ತು ವರ್ಷಗಳ ಹಿಂದಿನ ಮತ್ತು ಈ ಹಣಕಾಸು ವರ್ಷದ ಕೇಂದ್ರ ಸರ್ಕಾರದ ಬಜೆಟ್ ಗಾತ್ರದಲ್ಲಿನ ಹೆಚ್ಚಳವನ್ನು ಗಣನೆಗೆ ತೆಗೆದುಕೊಳ್ಳಬೇಕಾಗುತ್ತದೆ. ರಾಜ್ಯ ಬಜೆಟ್ ಪ್ರಕಾರ 2020-21ನೇ ಹಣಕಾಸು ವರ್ಷದಲ್ಲಿ ನಿರೀಕ್ಷಿತ ತೆರಿಗೆ ಪಾಲು ರೂ.28,591 ಕೋಟಿ. ನನ್ನ ಪ್ರಕಾರ ಪ್ರಸಕ್ತ ವರ್ಷ ಮೊತ್ತ ರೂ.15,017 ಕೋಟಿಗೆ ಇಳಿದರೂ ಅಚ್ಚರಿ ಇಲ್ಲ. ಹೀಗಾದರೆ ಇದು 2019-20ರಲ ನಿರೀಕ್ಷೆಗಿಂತ ರೂ.33,751 ಕೋಟಿ ಇಲ್ಲವೇ ರಾಜ್ಯ ಬಜೆಟ್ ಅಂದಾಜಿಗಿಂತ ರೂ.24 789ರಷ್ಟು ಕಡಿಮೆ ಯಾಗುತ್ತದೆ.

ಜಿಎಸ್ ಟಿ ಪರಿಹಾರದಲ್ಲಿ ಕರ್ನಾಟಕಕ್ಕೆ ದೊಡ್ಡ ಅನ್ಯಾಯವಾಗಿದೆ. ಇತ್ತೀಚಿನ ಅಂದಾಜಿನ ಪ್ರಕಾರ ಜಿಎಸ್ ಟಿ ಪರಿಹಾರದಲ್ಲಿ ಅಂದಾಜು 25ರಿಂದ 27 ಸಾವಿರ ಕೋಟಿ ಖೋತಾ ಆಗಬಹುದು. ಕೇಂದ್ರ ಸರ್ಕಾರ ಇತ್ತೀಚೆಗೆ 18-19,000 ಕೋಟಿಯಷ್ಟೇ ಪರಿಹಾರ ನೀಡುವುದಾಗಿ ಹೇಳಿತ್ತು.
ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡಲಿರುವ ಅನುದಾನ ರೂ.31,570 ಕೋಟಿಗಳಷ್ಟಾಗಬಹುದೆಂದು ನಿರೀಕ್ಷಿಸಲಾಗಿತ್ತು. ಈಗಿನ ಲೆಕ್ಕಾಚಾರದ ಪ್ರಕಾರ ಇದು ರೂ.17,372 ಕೋಟಿ ಗಳಷ್ಟಾಗಬಹುದು. ಇದರಿಂದ ರೂ.14,198 ಕೋಟಿ ಖೋತಾ ಆಗಲಿದೆ. ರಾಜ್ಯದ ಹಣಕಾಸು ಪರಿಸ್ಥಿತಿಗೆ ಇದು ಮಾರಕ ಹೊಡೆತ ಎಂದು

ಒಟ್ಟಾರೆಯಾಗಿ ಕರ್ನಾಟಕ ರಾಜ್ಯ ಕಳೆದ ವರ್ಷಕ್ಕಿಂತ ಸುಮಾರು 50,000 ಕೋಟಿಯಷ್ಟು ಕಡಿಮೆ ಅನುದಾನ ಪಡೆಯಬಹುದು ಇದನ್ನು ಆಧರಿಸಿ ಪ್ರಸಕ್ತ ಹಣಕಾಸು ವರ್ಷದ ಆದಾಯ ರೂ.1,80,217 ಕೋಟಿ ಗಳಾಗಬಹುದೆಂದು ರಾಜ್ಯ ಬಜೆಟ್ ನಲ್ಲಿ ನಿರೀಕ್ಷಿಸಲಾಗಿತ್ತು. ಕೇಂದ್ರ ಅನುದಾನದ ಕಡಿತದಿಂದಾಗಿ ಇದು ರೂ.1,14,758 ಕೋಟಿಗೆ ಇಳಿಯುವ ನಿರೀಕ್ಷೆ ಇದೆ.
ದಶಕಗಳಿಂದ ನಮ್ಮ ಒಟ್ಟು ಸಾಲ ಸುಮಾರು ರೂ.3.2ಲಕ್ಷ ಕೋಟಿಗಳೆಂದು ಅಂದಾಜು ಮಾಡಲಾಗಿದೆ. ಆದರೆ ಈಗಿನ ಒಂದೇ ವರ್ಷದಲ್ಲಿ ಸುಮಾರು ರೂ.90,000 ಕೋಟಿ ಸಾಲ ಪಡೆಯಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಮೂಲಕ ಬಿಜೆಪಿ ಸರ್ಕಾರ ಕರ್ನಾಟಕವನ್ನು ಶಾಶ್ವತ ಸಾಲಗಾರ ರಾಜ್ಯವನ್ನಾಗಿ ಮಾಡಲು ಹೊರಟಿದೆ.

ಕೇಂದ್ರದಿಂದ ಸಿಗಬೇಕಾಗಿರುವ ತೆರಿಗೆ ಪಾಲು ಮತ್ತು ಅನುದಾನದ ಖೋತಾದಿಂದಾಗಿ ಆರ್ಥಿಕ ನಷ್ಟಕ್ಕೀಡಾಗಿರುವ ಕರ್ನಾಟಕಕ್ಕೆ ವಿಶೇಷ ಅನುದಾನದ ರೂಪದಲ್ಲಿ ರೂ.5,495 ಕೋಟಿ ನೀಡಬೇಕೆಂದು ಹಣಕಾಸು ಆಯೋಗ ಶಿಫಾರಸು ಮಾಡಿತ್ತು. ಈ ಅನುದಾನದ ನೆರವಿಗೂ ಕರ್ನಾಟಕದಿಂದ ಆಯ್ಕೆಯಾಗಿ ಹೋಗಿರುವ ಈಗಿನ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅಡ್ಡಗಾಲು ಹಾಕಿದ್ದಾರೆ.

ಕಾಂಗ್ರೆಸ್ ಪಕ್ಷದ ವಿರುದ್ಧ ಈ ರೀತಿ ತಿರುಚಿದ ಅಂಕಿಅಂಶಗಳನ್ನು ಮುಂದಿಟ್ಟುಕೊಂಡು ಆರೋಪಗಳನ್ನು ಮಾಡುವ ಮೊದಲು ಕೇಂದ್ರ ಹೋಮ್ ಮಿನಿಸ್ಟರ್ ಅಮಿತ್ ಶಾ ಅವರು ಮತ್ತೊಮ್ಮೆ ತಮ್ಮ ಹೋಂವರ್ಕ್ ಸರಿಯಾಗಿ ಮಾಡಿಕೊಂಡು ಬರಬೇಕೆಂದು ಅವರಿಗೆ ಸಲಹೆ ನೀಡುತ್ತೇನೆ ಎಂದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ನನ್ನ ನೆಚ್ಚಿನ ಪುಸ್ತಕ ವಿಮರ್ಶೆ ಸ್ಪರ್ಧೆ ; ವಿದ್ಯಾರ್ಥಿಗಳಿಗೆ ಬಹುಮಾನ

Published

on

ಸುದ್ದಿದಿನ,ದಾವಣಗೆರೆ:ಪೂಜ್ಯ ಡಾ|| ಸದ್ಯೋಜಾತ ಶಿವಾಚಾರ್ಯ ಮಹಾಸ್ವಾಮಿಗಳವರ ಸ್ಮರಣಾರ್ಥ ಹಾಗೂ ಶಿಕ್ಷಕರ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ದಾವಣಗೆರೆ ಜಿಲ್ಲಾ ಮಟ್ಟದ “ನನ್ನ ನೆಚ್ಚಿನ ಪುಸ್ತಕ” ವಿಮರ್ಶೆ ಸ್ಪರ್ಧೆಯಲ್ಲಿ ಜಿಲ್ಲೆಯ ಹಲವಾರು ಪ್ರೌಢಶಾಲೆಯ ಮಕ್ಕಳು ಭಾಗವಹಿಸಿದ್ದರು.

ತೀರ್ಪುಗಾರರ ಮೆಚ್ಚುಗೆ ಪಡೆದ ಸಿದ್ಧಗಂಗಾ ಸಂಸ್ಥೆಯ ನಯಾಸ ಡಿ.ಎಸ್.‌ ಪ್ರಥಮ ಬಹುಮಾನವಾಗಿ ಒಂದು ಸಾವಿರ, ದ್ವಿತೀಯ ಬಹುಮಾನ ಗಳಿಸಿದ ಜಾಹ್ನವಿ ರೂ. 750 ಮತ್ತು ತೃತೀಯ ಬಹುಮಾನ ಗಳಿಸಿದ ಚೈತನ್ಯ ವಿ. ಎಸ್‌. ರೂ. 500 ನಗದು ಬಹುಮಾನ ಪಡೆದರು. ಜೊತೆಗೆ ಈ ಮಕ್ಕಳಿಗೆ ಆಯೋಜಕರು ಸ್ಮರಣಿಕೆ, ಪ್ರಶಸ್ತಿಪತ್ರ ನೀಡಿ ಶಾಲು ಹೊದಿಸಿ ಸನ್ಮಾನಿಸಿದರು. ಎಳೆಯರ ಪ್ರಬುದ್ಧತೆಯನ್ನು ಶ್ಲಾಘಿಸಿದರು.

ಸಿದ್ಧಗಂಗಾ ವಿದ್ಯಾಸಂಸ್ಥೆಯ ಮುಖ್ಯಸ್ಥೆ ಜಸ್ಟಿನ್‌ ಡಿಸೌಜ ಅವರು ವಿಜೇತ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ವಿದ್ಯಾರ್ಥಿಗಳ ನಿರಂತರ ಪರಿಶ್ರಮ, ಶಿಕ್ಷಕರ ಮಾರ್ಗದರ್ಶನ ಪಾಲಕರ ಪ್ರೋತ್ಸಾಹ ಈ ಯಶಸ್ಸಿಗೆ ಕಾರಣವಾಗಿದೆ ಎಂದರು.

ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಪಠ್ಯಪುಸ್ತಕಗಳ ಜೊತೆಗೆ ಉತ್ತಮ ಕಾದಂಬರಿಗಳು, ಕಥಾಸಂಕಲನಗಳು, ಸಾಧಕರ ಆತ್ಮಕಥೆ ಕುರಿತಾದ ಪುಸ್ತಕಗಳನ್ನು ಓದುವ ಹವ್ಯಾಸ ಅತ್ಯಂತ ಮಹತ್ವದ್ದು, ಓದಿನ ಮೂಲಕ ಜ್ಞಾನ ವೃದ್ಧಿಯಾಗುವುದರ ಜೊತೆಗೆ ಚಿಂತನೆ, ವಿಶ್ಲೇಷಣೆ ಮತ್ತು ಅಭಿವ್ಯಕ್ತಿ ಸಾಮರ್ಥ್ಯವೂ ವೃದ್ಧಿಯಾಗುತ್ತದೆ. ವಿದ್ಯಾರ್ಥಿಗಳು ಮುಂದೆಯೂ ಇಂತಹ ಸಾಹಿತ್ಯಿಕ ಚಟುವಟಿಕೆಗಳಲ್ಲಿ ಸಕ್ರೀಯವಾಗಿ ಪಾಲ್ಗೊಂಡು ಹೆಚ್ಚಿನ ಸಾಧನೆ ಮಾಡಬೇಕು ಎಂದು ಶುಭ ಹಾರೈಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಚಿತ್ರದುರ್ಗ | ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಡಿ.ಡಿ ಬಿ.ಮಲ್ಲಿಕಾರ್ಜುನ, ಕ್ರೈಸ್ ಇ.ಡಿ ಬಿ.ಶಿವಸ್ವಾಮಿ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ಚಿತ್ರದುರ್ಗ: ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ವಸತಿ ಶಾಲೆಗಳಿಗೆ (ಕ್ರೈಸ್) ನಿಯಮಾನುಸಾರ ಆಹಾರ ಸಾಮಾಗ್ರಿಗಳನ್ನು ಸರಬರಾಜು ಮಾಡದೆ ವಂಚಿಸುತ್ತಿರುವ ಶ್ರೀ ಶಿರಡಿ ಪ್ರಾವಿಜನ್ ಸ್ಟೋರ್, ಚಿಕ್ಕಬಳ್ಳಾಪುರ ಇವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರಿದ ಚಿತ್ರದುರ್ಗ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಬಿ. ಮಲ್ಲಿಕಾರ್ಜುನ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಇದರ ಕಾರ್ಯನಿರ್ವಾಹಕ ನಿರ್ದೇಶಕರಾದ ಬಿ.ಶಿವಸ್ವಾಮಿ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ ವಸತಿ ಶಾಲೆಗಳಿಗೆ ಅಧಿಕೃತ ಟೆಂಡರುದಾರರಾದ ಶ್ರೀ ಶಿರಡಿ ಸಾಯಿ ಪ್ರಾವಿಜನ್ ಸ್ಟೋರ್, ಚಿಕ್ಕಬಳ್ಳಾಪುರ ಇವರು ನಿಯಮಾನುಸಾರ ಆಹಾರ ಸಾಮಾಗ್ರಿಗಳನ್ನು ವಿತರಣೆ ಮಾಡದೆ ಇರುವ ಅಧಿಕೃತ ಮಾಹಿತಿ ತಿಳಿದು, ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಚಿತ್ರದುರ್ಗ ಇವುಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳ ಪ್ರಾಂಶುಪಾಲರುಗಳಿAದ ಮಾಹಿತಿಹಕ್ಕು ಅಡಿಯಲ್ಲಿ ಪಡೆದ ದೃಢೀಕೃತ ದಾಖಲೆಗಳನ್ನು ಪರಿಶೀಲನೆ ಮಾಡಿದಾಗ ಆಹಾರ ಸಾಮಾಗ್ರಿ ಸರಬರಾಜಿನಲ್ಲಿ ಹಲವಾರು ಲೋಪದೋಷಗಳು ಕಂಡು ಬಂದಿರುತ್ತವೆ.

ಆದ ಕಾರಣ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಉಪ ನಿರ್ದೇಶಕರು, ಜಿಲ್ಲಾ ಸಮಾಜ ಕಲ್ಯಾಣ ನಾವು ದೂರು ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಯಾವುದೇ ಪ್ರತ್ಯುತ್ತರವನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ಇರುವ ಕಾರಣ ದಿನಾಂಕ: 21-04-2026 ರಂದು ಜ್ಞಾಪನವನ್ನು ನೀಡಲಾಗಿತ್ತು. ಆದರೆ ಜ್ಞಾಪನ ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಉಪ ನಿರ್ದೇಶಕರು, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ, ಚಿತ್ರದುರ್ಗ ದೂರು ಅರ್ಜಿಗೆ ಸಂಬAಧಿಸಿದAತೆ ತನಿಖಾ ವರದಿಯನ್ನಾಗಲಿ ಅಥವಾ ಪ್ರತ್ಯುತ್ತರವನ್ನಾಗಲಿ ನೀಡಿರುವುದಿಲ್ಲ.

ಈ ಬಗ್ಗೆ ಕಾರ್ಯನಿರ್ವಾಹಕ ನಿರ್ದೇಶಕರು, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಬೆಂಗಳೂರು ಇವರಿಗೆ ದೂರು ನೀಡಲಾಗಿತ್ತು. ಆದರೆ ಇವರು ಕೂಡ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಕರ್ತವ್ಯ ಲೋಪ ಎಸಗಿದ ಅಧಿಕಾರಿಗಳ ವಿರುದ್ದ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಾಳೆ ʼನಿರಾಕಾರ ವಿಶ್ವಕರ್ಮʼ ಕೃತಿ ಬಿಡುಗಡೆ

Published

on

ಸುದ್ದಿದಿನ,ಬೆಂಗಳೂರು:ಕಾವ್ಯಸ್ಪಂದನ ಪ್ರಕಾಶನವು ಪ್ರಕಟಿಸಿರುವ ಪತ್ರಕರ್ತ, ಲೇಖಕ ಚಂದ್ರಶೇಖರ ಗಂಧನಹಳ್ಳಿ ಅವರ ʼನಿರಾಕಾರ ವಿಶ್ವಕರ್ಮʼ ಕೃತಿಯು ಸೆಪ್ಟೆಂಬರ್‌ 17ರಂದು ಬಿಡುಗಡೆಯಾಗಲಿದೆ. ಅಂದು ಬೆಳಗ್ಗೆ 10.30ಕ್ಕೆ ಮೈಸೂರು ಜಿಲ್ಲೆ, ಕೆ.ಆರ್.ನಗರ ತಾಲೂಕು ಆಡಳಿತ ಕಚೇರಿಯ ಸಭಾಂಗಣದಲ್ಲಿ ತಾಲೂಕು ಆಡಳಿತದ ಆಶ್ರಯ, ತಾಲೂಕು ವಿಶ್ವಕರ್ಮ ಸೇವಾ ಸಮಾಜ ಹಾಗೂ ತಾಲೂಕು ವಿಶ್ವಕರ್ಮ ಸಂಘದ ಜಂಟಿ ವತಿಯಿಂದ ಆಯೋಜಿಸಿರುವ ‘ವಿಶ್ವಕರ್ಮ ಜಯಂತಿ’ ಕಾರ್ಯಕ್ರಮದಲ್ಲಿ ಶಾಸಕರಾದ ಡಿ. ರವಿಶಂಕರ್‌ ಅವರು ಕೃತಿಯನ್ನು ಲೋಕಾರ್ಪಣೆ ಮಾಡಲಿದ್ದಾರೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಹಶೀಲ್ದಾರ್‌ ಜಿ. ಸುರೇಂದ್ರ ಮೂರ್ತಿ ಅವರು ವಹಿಸಲಿದ್ದಾರೆ. ತಾಲೂಕು ವಿಶ್ವಕರ್ಮ ಸೇವಾ ಸಮಾಜದ ಅಧ್ಯಕ್ಷ ರೇವಣ್ಣ, ತಾಲೂಕು ವಿಶ್ವಕರ್ಮ ಸಂಘದ ಅಧ್ಯಕ್ಷ ವೇಣುಗೋಪಾಲ್‌ ಎನ್., ಪದಾಧಿಕಾರಿಗಳಾದ ಈಶ್ವರಾಚಾರ್‌, ಚೇತನ್‌ ಮೂರ್ತಿ ಸೇರಿದಂತೆ ವಿಶ್ವಕರ್ಮ ಸಮುದಾಯದ ಮುಖಂಡರು ಹಾಗೂ ತಾಲೂಕು ಆಡಳಿತದ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ. ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಶ್ರೀ ಕಾಳಿಕಾಂಬಾ ದೇವಾಲಯದಲ್ಲಿ ವಿಶ್ವಕರ್ಮ ಜಯಂತಿ ಪ್ರಯುಕ್ತ ವಿಶೇಷ ಪೂಜೆ ನೆರವೇರಲಿದ್ದು, ಬಳಿಕ ಅಲ್ಲಿಂದ ತಾಲೂಕು ಆಡಳಿತ ಕಚೇರಿಯವರೆಗೆ ಮೆರವಣಿಗೆ ನಡೆಯಲಿದೆ.

ವಿಶೇಷವೆಂದರೆ, ಪ್ರಕಾಶಕರು ಹಾಗೂ ಆಯೋಜಕರ ಆಸಕ್ತಿಯ ಮೇರೆಗೆ ‘ನಿರಾಕಾರ ವಿಶ್ವಕರ್ಮ’ ಕೃತಿಯನ್ನು ತಿಂಗಳ ಅಂತರದಲ್ಲಿ ಮೂರು ಪ್ರತ್ಯೇಕ ಕಾರ್ಯಕ್ರಮಗಳಲ್ಲಿ ಬಿಡುಗಡೆ ಮಾಡಲಾಗುತ್ತಿದೆ. ಸೆಪ್ಟೆಂಬರ್‌ 17ರಂದು ಕೆ.ಆರ್.ನಗರದಲ್ಲಿ ಕೃತಿ ಬಿಡುಗಡೆಯಾದರೆ, ಸೆಪ್ಟೆಂಬರ್‌ 20ರಂದು ಬೆಂಗಳೂರಿನ ತಾತಗುಣಿಯ ವಿಶ್ವಕರ್ಮ ನಗರದಲ್ಲಿ ಕರ್ನಾಟಕ ರಾಜ್ಯ ವಿಶ್ವಕರ್ಮ ಮಹಾಮಂಡಳಿಯ ವತಿಯಿಂದ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ಕೃತಿ ಲೋಕಾರ್ಪಣೆಗೊಳ್ಳಲಿದೆ. ಹಾಗೆಯೇ, ನವೆಂಬರ್‌ 22ರಂದು ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಕಾವ್ಯಸ್ಪಂದನ ಪ್ರಕಾಶನ ಏರ್ಪಡಿಸಿರುವ ಕಾರ್ಯಕ್ರಮದಲ್ಲಿಯೂ ಈ ಕೃತಿ ಬಿಡುಗಡೆಯಾಗಲಿದೆ.

ಮಾನವ ನಾಗರಿಕತೆಯ ಇತಿಹಾಸವನ್ನು ತೆರೆದರೆ, ಅದರ ಪ್ರತಿಯೊಂದು ಪುಟದ ಹಿಂದೆಯೂ ಶ್ರಮಿಸಿದ ಅನಾಮಿಕ ಕೈಗಳು ಕಾಣಿಸುತ್ತವೆ. ಆ ಕೈಗಳು ಕಲ್ಲನ್ನು ಕೆತ್ತಿ ದೇವಸ್ಥಾನವಾಗಿಸಿವೆ, ಕಬ್ಬಿಣವನ್ನು ಬಡಿದು ಆಯುಧವಾಗಿಸಿವೆ, ಮರಕ್ಕೆ ರೂಪ ಕೊಟ್ಟು ಬಾಗಿಲಾಗಿಸಿವೆ, ಮಣ್ಣಿಗೆ ಜೀವ ತುಂಬಿ ಮಡಕೆಯಾಗಿಸಿವೆ; ಹಾಗೆಯೇ ಬಣ್ಣಗಳ ಮೂಲಕ ಅಚ್ಚಳಿಯದ ಭಾವನೆಗಳನ್ನು ಮೂಡಿಸಿವೆ. ಆ ಸೃಷ್ಟಿಶೀಲ ಕೈಗಳಿಗೆ ಬಹುಶಃ ಇತಿಹಾಸದ ಅಧಿಕೃತ ಪುಟಗಳಲ್ಲಿ, ರಾಜ-ಮಹಾರಾಜರ ಕಥೆಗಳ ನಡುವೆ ದೊಡ್ಡ ಅಕ್ಷರಗಳಲ್ಲಿ ಹೆಸರು ಸಿಕ್ಕಿಲ್ಲದಿರಬಹುದು. ಆದರೆ ಅವರು ನಿರ್ಮಿಸಿದ ಕಲೆ, ಶಿಲ್ಪ, ವಾಸ್ತು, ಉಪಕರಣ ಮತ್ತು ಸೌಂದರ್ಯವೇ ನಮ್ಮ ನಾಗರಿಕತೆಯ ಉಸಿರಾಗಿ, ಜೀವಂತ ಸಾಕ್ಷಿಗಳಾಗಿ ಇಂದಿಗೂ ಉಳಿದಿವೆ. ಅಂತಹ ಸೃಜನಶೀಲ ಕೈಗಳ ಸಮೂಹ ಸ್ಮೃತಿಯನ್ನು, ಪರಂಪರೆಯನ್ನು ಮತ್ತು ಇತಿಹಾಸವನ್ನು ಅರಿಯುವ ಅರ್ಥಪೂರ್ಣ ಪ್ರಯತ್ನವನ್ನು ನಿರಾಕಾರ ವಿಶ್ವಕರ್ಮ ಕೃತಿಯಲ್ಲಿ ಲೇಖಕರಾದ ಚಂದ್ರಶೇಖರ ಗಂಧನಹಳ್ಳಿ ಅವರು ಮಾಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending