ಬಹಿರಂಗ
ಕೇಸರಿ ಶಾಲು ಹಿಡಿದ ವಿದ್ಯಾರ್ಥಿ ಸೋದರರಿಗೆ ಒಂದು ಬಹಿರಂಗ ಪತ್ರ
- ಹರ್ಷಕುಮಾರ್ ಕುಗ್ವೆ
ಕೇಸರಿ ಶಾಲು, ಕೇಸರಿ ಮುಂಡಾಸು ಹಾಕಿಕೊಂಡು ಮುಸ್ಲಿಂ ಹೆಣ್ಣುಮಕ್ಕಳ ‘ಹಿಜಾಬ್’ ವಿರುದ್ಧ ಬೀದಿಗೆ ಇಳಿದಿರುವ ನನ್ನ ಹಿಂದುಳಿದ ವರ್ಗಗಳ ಮತ್ತು ದಲಿತ ಸಮುದಾಯಗಳ ತಮ್ಮಂದಿರೆ, ನಿಮ್ಮೊಂದಿಗೆ ಕೆಲವು ವಿಷಯಗಳನ್ನು ಹಂಚಿಕೊಳ್ಳಬೇಕು ಎನಿಸಿ ಈ ಬಹಿರಂಗ ಪತ್ರ ಬರೆಯುತ್ತಿದ್ದೇನೆ. ದಯವಿಟ್ಟು ಎರಡು ನಿಮಿಷ ಸಮಾಧಾನದಿಂದ ಓದಿ. ನಂತರ ಆಲೋಚಿಸಿ, ತೀರ್ಮಾನಕ್ಕೆ ಬನ್ನಿ. ನಿಮ್ಮೆಲ್ಲರ ಮೇಲಿನ ಪ್ರೀತಿ, ಕಾಳಜಿಯಿಂದ ನಿಮ್ಮ ಒಬ್ಬ ಅಣ್ಣನಾಗಿ ನಾನು ಬರೆಯುತ್ತಿರುವ ಪತ್ರ.
ನೀವು ಯಾರದೋ ಮಾತು ಕೇಳಿಯೋ ಅಥವಾ ಮೀಡಿಯಾಗಳಲ್ಲಿ ಬಂದ ಸುದ್ದಿಗಳನ್ನು ನೋಡಿಯೋ ‘ಹಿಜಾಬ್ ವಿರುದ್ಧ” ಬೀದಿಗೆ ಇಳಿದಿದ್ದೀರಿ. ಮುಸ್ಲಿಂ ಹೆಣ್ಣುಮಕ್ಕಳು ಯೂನಿಫಾರಂ ಧರಿಸಿಕೊಂಡು ತಮ್ಮ ವೇಲ್ಗಳನ್ನು ಹಿಜಾಬ್ ಆಗಿ ತಲೆಗೆ ಸುತ್ತಿಕೊಂಡು ತರಗತಿಗಳಲ್ಲಿ ಕುಳಿತುಕೊಳ್ಳುವುದು ಸರಿಯೋ ತಪ್ಪೋ ಅಥವಾ ಅದಕ್ಕೆ ಅವಕಾಶ ಇದೆಯೇ ಇಲ್ಲವೇ ಎಂದು ನಂತರ ನೋಡೋಣ. ಈಗ ನಿಮ್ಮ ಜೀವನದ ಬಗ್ಗೆ ಕೆಲವು ಮುಖ್ಯ ವಿಷಯ ಹೇಳಬೇಕಿದೆ.
ನಿಮ್ಮಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ನಿಮ್ಮ ಕುಟುಂಬದಲ್ಲಿ ಶಿಕ್ಷಣ ಪಡೆಯುತ್ತಿರುವ ಮೊದಲ ತಲೆಮಾರಿನವರು. ಬಹುಶಃ ನಿಮ್ಮ ಅಪ್ಪನಾಗಲೀ ಅವ್ವನಾಗಲೀ ಕಾಲೇಜು ಮೆಟ್ಟಿಲು ಹತ್ತಿರಲಿಕ್ಕಿಲ್ಲ. ಅವರು ಹೊಲಗಳಲ್ಲೋ, ಫ್ಯಾಕ್ಟರಿಗಳಲ್ಲೋ ದುಡಿದು ದಣಿದು ನಿಮ್ಮ ಬಗ್ಗೆ ಅಪಾರ ಕನಸು ಕಟ್ಟಿಕೊಂಡು ತಮ್ಮ ಹೊಟ್ಟೆ ಬಟ್ಟೆ ಕಟ್ಟಿ ನಿಮ್ಮನ್ನು ಶಾಲೇ ಕಾಲೇಜು ಓದಲು ಕಳಿಸಿದ್ದಾರೆ ಎಂದು ನಾನು ಬಲ್ಲೆ. ನೀವು ಚನ್ನಾಗಿ ಓದಿ ಒಳ್ಳೆಯ ಅಂಕ ಗಳಿಸಿ, ಮುಂದೆ ಉದ್ಯೋಗಗಳನ್ನು ಪಡೆಯಲು ಸಾಕಷ್ಟು ಕಷ್ಟ ಪಡಬೇಕಾಗಿದೆ. ಉದ್ಯೋಗಗಳೇ ಗಗನ ಕುಸುಮವಾಗಿರುವ ಈ ದಿನಗಳಲ್ಲಿ ಒಂದು ಉದ್ಯೋಗ ಪಡೆದು ಜೀವನ ಕಟ್ಟಿಕೊಳ್ಳುವುದು ಅಷ್ಟು ಸುಲಭದ ಮಾತಲ್ಲ.
ಸ್ವಲ್ಪ ಯೋಚಿಸಿ, ನಿಮ್ಮ ತಂದೆ ತಾಯಿಗಳಿಗೆ ಕಳೆದ 20-30 ವರ್ಷಗಳ ಹಿಂದೆ ಈ ಅವಕಾಶಗಳೂ ಇರಲಿಲ್ಲ. ಯಾಕೆಂದರೆ ಅವರ ತಂದೆ ತಾಯಿಗಳು ಮತ್ತು ಅಜ್ಜ ಅಜ್ಜಿಯಂದಿರು ಯಾರದೋ ದೊಡ್ಡ ಜಮೀನುದಾರರ ಮನೆಗಳಲ್ಲಿ ಗೇಣಿದಾರರಾಗಿಯೋ ಇಲ್ಲವೇ ಬಿಟ್ಟಿ ಚಾಕರಿ ಮಾಡಿಕೊಂಡೋ ಕಾಲ ಕಳೆಯುವ ಸ್ಥಿತಿ ಇತ್ತು.
ಆದರೆ ನಮ್ಮ ದೇಶದ ಸಂವಿಧಾನ ಸ್ವಾತಂತ್ರ್ಯ, ಸಮಾನತೆ, ಸಹೋದರತೆ ಮತ್ತು ಸಾಮಾಜಿಕ ನ್ಯಾಯಗಳನ್ನು ಹೇಳಿದ ಕಾರಣದಿಂದ ಗೇಣಿದಾರರಾಗಿದ್ದ ನಮ್ಮ ಹೀರೀಕರು ಜಮೀನಿಗೆ ಒಡೆಯರಾದರು ಮತ್ತು ಸಂವಿಧಾನದ ಮೂಲಕ ಬಂದ OBC, SC/ST ಮೀಸಲಾತಿಗಳ ಕಾರಣದಿಂದ ಹಿಂದುಳಿದ ಜಾತಿಗಳ ಮತ್ತು ದಲಿತ ಸಮುದಾಯಗಳ ವಿದ್ಯಾವಂತರಿಗೆ ನೌಕರಿಗಳು ಸಿಕ್ಕಿದವು. ನನ್ನ ಮಾತು ನಿಜವೋ ಸುಳ್ಳೋ ಎಂದು ನಿಮ್ಮ ಕುಟುಂಬದ ಹಿರಿಯರನ್ನೇ ಕೇಳಿ ನೋಡಿ. ನಿಮಗೇ ತಿಳಿಯುತ್ತದೆ.
ಸೋದರರೆ ಈಗ ನಿಮ್ಮ ಎದುರಿಗೆ ಇರುವ ಜೀವನದ ಸವಾಲುಗಳು ಎಷ್ಟು ಕಷ್ಟದವು ಎಂದು ಯೋಚಿಸಿ. ಒಂದು ಕಡೆ ಸರ್ಕಾರಗಳು ಹೆಚ್ಚು ನೌಕರಿಗಳನ್ನು ಒದಗಿಸುತ್ತಿಲ್ಲ. 100 ಉದ್ಯೋಗ ನೇಮಕಾತಿಗೆ ಸರ್ಕಾರ ಕಾಲ್ಫಾರ್ ಮಾಡಿದರೆ 1 ಲಕ್ಷ ಜನರು ಅರ್ಜಿ ಸಲ್ಲಿಸುತ್ತಾರೆ. ವಿಪರೀತ ಸ್ಪರ್ಧೆ. ಮತ್ತೆ ಅದರಲ್ಲಿ ಒಳ್ಳೆಯ ಅಂಕವಿರುವುದರ ಜೊತೆಗೆ ಯಾರು ಲಕ್ಷ ಲಕ್ಷ ರೂಪಾಯಿ ಲಂಚ ಕೊಡುತ್ತಾರೋ ಅವರಿಗೆ ಜಾಬ್ಗಳು ಸಿಗುವ ಸ್ಥಿತಿ ಇದೆ.
ಹೀಗಿರುವಾಗ ನಿಮ್ಮಂತಹ ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಮೇಲೆ ಎಷ್ಟು ಗಮನ ಹರಿಸಬೇಕು ಎಂದು ಯೋಚಿಸಿ. ನಿಮ್ಮ ತಂದೆ ತಾಯಿಗಳ ಕನಸು ನನಸು ಮಾಡುವ ಹೊಣೆ ಹೊತ್ತಿರುವ ನೀವು ಹಗಲು ರಾತ್ರಿ ಓದಬೇಕಾಗಿತ್ತು. ಅದೂ ಈಗ ಕೊರೊನಾ ಕಾರಣದಿಂದ ಸರಿಯಾಗಿ ತರಗತಿಗಳೇ ನಡೆಯದೇ ಇರುವಾಗ ಹತ್ತಿರ ಬಂದಿರುವ ಪರೀಕ್ಷೆಗಳಲ್ಲಿ ಉತ್ತಮ ಅಂಕ ಗಳಿಸಲು ನೀವು ಎಷ್ಟೊಂದು ಕಷ್ಟಪಡಬೇಕಿದೆ.
ನಮ್ಮ ಸಂವಿಧಾನ ಶಿಲ್ಪಿ, ಬಾಬಾಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಅವರ ಈ ಮಾತನ್ನು ಗಮನವಿಟ್ಟು ಓದಿ.
‘ಭಾರತದಲ್ಲಿ ಬಡವರಿಗೂ ಶ್ರೀಮಂತರಿಗೂ, ದಲಿತ ಹಿಂದುಳಿದವರಿಗೂ ಮೇಲ್ಜಾತಿಗಳಿಗೂ ನಡುವೆ ಸಮಾನತೆ ಸಾಧ್ಯವಾಗಬೇಕು ಎಂದರೆ ದಲಿತ-ಹಿಂದುಳಿದ ವರ್ಗಗಳು ಉನ್ನತ ಶಿಕ್ಷಣ ಪಡೆಯುವುದರ ಮೂಲಕ ಮಾತ್ರ ಸಾಧ್ಯ.
ಉನ್ನತ ವರ್ಗಗಳಿಗೂ ಕೆಳ ವರ್ಗಗಳಿಗೂ ಹುಟ್ಟಿನ ಆಧಾರದ ಮೇಲೆ ಉಂಟಾಗಿರುವ ಕೃತಕ ತಾರತಮ್ಯವು ಆದಷ್ಟು ಬೇಗ ಕೊನೆಗೊಳ್ಳಬೇಕು. ಆದರೆ ಕೆಳ ವರ್ಗಗಳು ಶಿಕ್ಷಣದಲ್ಲಿ ಉನ್ನತ ವರ್ಗಗಳಿಗೆ ಸರಿಸಮ ಮಟ್ಟಕ್ಕೆ ಏರುವವರೆಗೂ ಇದು ಸಾಧ್ಯವಾಗುವುದಿಲ್ಲ” (ಅಂಬೇಡ್ಕರ್ ಬರೆಹಗಳು ಮತ್ತು ಭಾಷಣಗಳು ಸಂಪುಟ 17, ಭಾಗ 1, ಪುಟ 389-90)
ಇಲ್ಲಿ ಬಾಬಾಸಾಹೇಬರು ದಲಿತ-ಹಿಂದುಳಿದ ವರ್ಗಗಳು ಉನ್ನತ ಶಿಕ್ಷಣ ಪಡೆಯುವುದು ಎಷ್ಟು ಮುಖ್ಯ ಎಂದು ತಿಳಿಸಿದ್ದಾರೆ. ನಿಮ್ಮಲ್ಲಿ ಅನೇಕರು ಇನ್ನೂ ಪಿಯುಸಿ, ಪದವಿ ತರಗತಿಗಳಲ್ಲಿ ಓದುತ್ತಿದ್ದೀರಿ. ನಿಮ್ಮಲ್ಲಿ ಎಷ್ಟು ಮಂದಿ ಉನ್ನತ ಶಿಕ್ಷಣ ಅಂದರೆ ಎಂಎ, ಎಂಎಸ್ಸಿ, ಎಂಕಾಂ, ಮೆಡಿಕಲ್, ಇಂಜಿನಿಯರಿಂಗ್ ಇತ್ಯಾದಿ ಓದಲು ಶಕ್ತರಿದ್ದೀರಿ ಆಲೋಚಿಸಿ. ಇದಕ್ಕಾಗಿ ನೀವೇನು ಮಾಡುತ್ತಿದ್ದೀರಿ ಎಂದೂ ಯೋಚಿಸಿ.
ಈಗ ಹಿಜಾಬ್’ ವಿಷಯ ಬಂದಿದೆ. ಇದಕ್ಕೆ ಮೊದಲು ಮತ್ತೂ ಒಂದು ವಿಷಯ ಹೇಳಿಬಿಡುತ್ತೇನೆ. ಈಗ ಕೇವಲ 200 ವರ್ಷಗಳ ಹಿಂದೆ ಈ ದೇಶದಲ್ಲಿ ಹಿಂದುಳಿದ ವರ್ಗಗಳ ಹೆಣ್ಣುಮಕ್ಕಳಾಗಲೀ, ದಲಿತ ಹೆಣ್ಣುಮಕ್ಕಳಾಗಲೀ, ಬ್ರಾಹ್ಮಣ ಹೆಣ್ಣುಮಕ್ಕಳಾಗಲೀ ಶಾಲೆಗೆ ಹೋಗುವಂತಿರಲಿಲ್ಲ. ಶಿಕ್ಷಣ ಎನ್ನುವುದು ಸಮಾಜದ ಕೆಲವೇ ಉನ್ನತ ಜಾತಿ ವರ್ಗಗಳ ಸೊತ್ತಾಗಿದ್ದ ಕಾಲ ಅದು. ಆ ಹೊತ್ತಿನಲ್ಲಿ ಈ ಮೂರೂ ಸಮುದಾಯಗಳ ಹೆಣ್ಣುಮಕ್ಕಳ ಶಿಕ್ಷಣದ ಪರವಾಗಿ ಮೊದಲು ದನಿ ಎತ್ತಿದ್ದ ಮೂವರು ಮಹಾನ್ ವ್ಯಕ್ತಿಗಳೆಂದರೆ ಸಾವಿತ್ರಿ ಬಾ ಫುಲೆ, ಫಾತಿಮಾ ಶೇಖ್ ಮತ್ತು ಜ್ಯೋತಿಬಾ ಫುಲೆ.
ಇವರಲ್ಲಿ ಫಾತಿಮಾ ಶೇಖ್ ಎಂಬ ಧೀಮಂತ ಮಹಿಳೆಯ ಮನೆಯಲ್ಲೇ ಜ್ಯೋತಿಬಾ ಫುಲೆ ಮತ್ತು ಸಾವಿತ್ರಿ ಬಾ ಫುಲೆ ವಸತಿ ಪಡೆದಿರುತ್ತಾರೆ. ನಂತರ ಸಾವಿತ್ರಿ ಬಾ ಫುಲೆ ಈ ದೇಶದ ಮೊತ್ತ ಮೊದಲ ಶಿಕ್ಷಕಿಯಾಗುತ್ತಾರೆ. ಅವರು ತೆರೆದ ಐದು ಶಾಲೆಗಳಲ್ಲೂ ಫಾತಿಮಾ ಶೇಕ್ ಶಿಕ್ಷಕಿಯಾಗುವ ಮೂಲಕ ಭಾರತದ ಮೊಟ್ಟಮೊದಲ ಮುಸ್ಲಿಂ ಶಿಕ್ಷಕಿ ಎನಿಸಿಕೊಳ್ಳುತ್ತಾರೆ. ಆ ಶಾಲೆಗಳಲ್ಲಿ ಫಾತಿಮಾ ಶೇಖ್ ಅವರು ಸಾವಿರಾರು ಬಡ ದಲಿತ, ಹಿಂದುಳಿದ ಹಾಗೂ ಬ್ರಾಹ್ಮಣ ಹೆಣ್ಣುಮಕ್ಕಳಿಗೆ ಪಾಠ ಹೇಳಿಕೊಡುತ್ತಾರೆ. ನಿಮಗೆ ಗೊತ್ತಿರಲಿಕ್ಕಿಲ್ಲ.
ಅಂದು ಸಾವಿತ್ರಿ ಬಾ ಫುಲೆ ದಲಿತರಿಗೆ ಮತ್ತು ಹಿಂದುಳಿದವರಿಗಾಗಿ ಈ ಶಾಲೆಗಳನ್ನು ತೆರೆದಾಗ ಅವರ ಮೈಮೇಲೆ ಸೆಗಣಿ ಎರಚುವ ಕೆಲಸವನ್ನು ಮೇಲ್ಜಾತಿಗಳ ಜನರು ಮಾಡುತ್ತಾರೆ. ಯಾಕೆಂದರೆ ಯಕಶ್ಚಿತ್ ಶೂದ್ರ ದಲಿತರಿಗೆ ಶಿಕ್ಷಣ ನೀಡುವುದೇ ಅಪರಾಧ ಎಂದು ಮೇಲ್ಜಾತಿಗಳ ಜನರು ಭಾವಿಸಿದ್ದ ಕಾಲದಲ್ಲಿ ಸಾವಿತ್ರಿ ಬಾ ಮತ್ತು ಫಾತಿಮಾ ಶೇಖ್ ಮಾಡುತ್ತಿದ್ದ ಕೆಲಸ ಧರ್ಮದ್ರೋಹದ ಕೆಲಸವಾಗಿ ಅವರಿಗೆ ಕಾಣುತ್ತದೆ. ಇಲ್ಲಿ ಫಾತಿಮಾ ಶೇಖ್ ಅವರ ವಿಷಯ ಯಾಕೆ ಪ್ರಸ್ತಾಪಿಸಿದೆ ಎಂದರೆ, ನೀವೆಲ್ಲಾ ಮುಸ್ಲಿಂ ಹೆಣ್ಣುಮಕ್ಕಳ ಹಿಜಾಬ್ ವಿರುದ್ಧ ಬೀದಿಗೆ ಇಳಿದಿರುವಾಗ ಈ ದೇಶದ ಹಿಂದುಳಿದ, ದಲಿತ ಮತ್ತು ಬ್ರಾಹ್ಮಣ ಹೆಣ್ಣು ಮಕ್ಕಳ ವಿದ್ಯಾಭ್ಯಾಸಕ್ಕಾಗಿ ತನ್ನ ಜೀವ ತೆತ್ತಿದ್ದವಳೂ ಅದೇ ಹಿಜಾಬ್ ತೊಟ್ಟಿದ್ದ ಒಬ್ಬ ಮುಸ್ಲಿಂ ಹೆಣ್ಣುಮಗಳು ಎಂದು ನೆನಪಿಸಲು.
ಸ್ವಲ್ಪ ಯೋಚಿಸಿ ಸೋದರರೆ, ಅವರೆಲ್ಲರೂ ನಡೆಸಿದ ಹೋರಾಟಗಳಿಂದಲೇ ಅಲ್ಲವೆ ಇಂದು ನಾವೆಲ್ಲಾ ಶಿಕ್ಷಣ ಪಡೆಯಲು ಸಾಧ್ಯವಾಗಿರುವುದು? ಅವರು ನಡೆಸಿದ ಹೋರಾಟವನ್ನು ಡಾ.ಬಿ.ಆರ್, ಅಂಬೇಡ್ಕರ್, ಶಾಹು ಮಹಾರಾಜ, ನಾಲ್ವಡಿ ಕೃಷ್ಣರಾಜ ಒಡೆಯರ್, ದೇವರಾಜ ಅರಸು, ಪ್ರೊ.ಬಿ. ಕೃಷ್ಣಪ್ಪ ಮೊದಲಾದವರು ಮುಂದುವರೆಸಿದ್ದರ ಪ್ರತಿಫಲವೇ ಇಂದು ಲಕ್ಷಾಂತರ ಸಂಖ್ಯೆಯಲ್ಲಿ ದಲಿತ-ಹಿಂದುಳಿದ ವರ್ಗಗಳ ಮಕ್ಕಳು ಶಿಕ್ಷಣ ಪಡೆಯಲು ಸಾಧ್ಯವಾಗಿರುವುದು. ಮಾಜಿ ಮುಖ್ಯಮಂತ್ರಿ ದಿ. ದೇವರಾಜ ಅರಸು ಅವರು ರಾಜ್ಯದಾದ್ಯಂತ ವಿದ್ಯಾರ್ಥಿ ನಿಲಯಗಳನ್ನು ತೆರೆಯದೇ ಇದ್ದರೆ, ನಂತರ ದೇವೇಗೌಡರು ಮೊರಾರ್ಜಿ ವಸತಿ ಶಾಲೆಗಳನ್ನು ತೆರೆಯದೇ ಇದ್ದರೆ ಇಂದು ಲಕ್ಷಾಂತರ ಹಿಂದುಳಿದ ಮತ್ತು ದಲಿತ ವರ್ಗಗಳ ವಿದ್ಯಾರ್ಥಿಗಳು ಹಾಸ್ಟೆಲುಗಳಲ್ಲಿ ಇದ್ದು ವಿದ್ಯಾಭ್ಯಾಸ ಪಡೆಯಲು ಸಾಧ್ಯವಿತ್ತೆ? ಯೋಚಿಸಿ.
ಒಂದು ಮಾತು ನಿಮಗೆ ಕಹಿ ಎನಿಸಿದರೂ ಪರವಾಗಿಲ್ಲ. ಇಂದು ಭಾರತದಲ್ಲಿ ಕೋಟ್ಯಂತರ ಹಿಂದುಳಿದ ಜಾತಿಗಳ ಮತ್ತು ದಲಿತ ಜಾತಿಗಳ ಜನರು ಶಿಕ್ಷಣ ಪಡೆಯಲು ಸಾದ್ಯವಾಗಿದೆ ಎಂದರೆ ಅದಕ್ಕೆ ಕಾರಣ ಯಾವುದೇ ಧರ್ಮವಾಗಲೀ, ಧರ್ಮ ಗ್ರಂಥವಾಗಲೀ ಅಲ್ಲ. ಇದಕ್ಕೆ ಕಾರಣ ಮೇಲೆ ಹೇಳಿದ ಮಹನೀಯರು ತಮ್ಮ ಬದುಕನ್ನೇ ಮುಡುಪಾಗಿಟ್ಟು ನಡೆಸಿದ ಹೋರಾಟ ಮತ್ತು ಬಾಬಾಸಾಹೇಬ್ ಅಂಬೇಡ್ಕರ್ ಅವರ ನಾಯಕತ್ವದಲ್ಲಿ ರಚನೆಯಾದ ಭಾರತದ ಸಂವಿಧಾನ.
ಈಗ ಏನು ನಡೆಯುತ್ತಿದೆ? ಯಾವ ವರ್ಗಗಳು ಶತ ಶತಮಾನಗಳಿಂದಲೂ ಒಬಿಸಿ ಹಿಂದುಳಿದ ಜಾತಿಗಳನ್ನು, ದಲಿತ ಜಾತಿಗಳನ್ನು ಅಕ್ಷರ ಕಲಿಕೆಯಿಂದ ದೂರ ಇಟ್ಟಿದ್ದರೋ ಅವರೇ ಈಗ ನಿಮ್ಮ ವಿರುದ್ಧ ಷಡ್ಯಂತ್ರ ನಡೆಸುತ್ತಿದ್ದಾರೆ. ಇಂದು ಸಾವಿರಾರು ಉದ್ಯೋಗಗಳು ಹಿಂದುಳಿದವರ ಮತ್ತು ದಲಿತರ ಪಾಲಾಗುತ್ತಿರುವುದನ್ನು ಸಹಿಸದ ಕೆಲವು ಶಕ್ತಿಗಳು ಹೇಗಾದರೂ ಮಾಡಿ ಹಿಂದುಳಿದ ಮತ್ತು ದಲಿತ ವರ್ಗಗಳ ವಿದ್ಯಾರ್ಥಿಗಳನ್ನು ದಾರಿ ತಪ್ಪಿಸಲು ನೋಡುತ್ತಿದ್ದಾರೆ.
ಇದಕ್ಕೆ ಅವರಿಗೆ ಇರುವ ಒಂದು ಸಾಧನ- ಧರ್ಮ- ಧರ್ಮ ರಕ್ಷಣೆ!! ಯೋಚಿಸಿ ನೋಡಿ. ಯಾರೆಲ್ಲಾ ಧರ್ಮ ರಕ್ಷಣೆ ಬಗ್ಗೆ ದೊಡ್ಡ ದೊಡ್ಡ ಮಾತು ಆಡುತ್ತಿದ್ದಾರೋ ಅವರ ಮಕ್ಕಳು ಯಾರೂ ಬೀದಿಯಲ್ಲಿ ಕೇಸರಿ ಶಾಲು ಹೊದ್ದು ಜೈ ಶ್ರೀ ರಾಮ್ ಘೋಷಣೆ ಕೂಗುತ್ತಲೇ ಇಲ್ಲ. ಅವರ ಮಕ್ಕಳೇನಿದ್ದರೂ ಪ್ರತಿಷ್ಠಿತ ಕ್ರಿಶ‍್ಚಿಯನ್ ಕಾನ್ವೆಂಟುಗಳಲ್ಲಿ, ದೊಡ್ಡ ದೊಡ್ಡ ನಗರಗಳ ಪ್ರತಿಷ್ಠಿತ ಬೋರ್ಡಿಂಗ್ ಶಾಲೆಗಳಲ್ಲಿ ಯಾವುದೇ ತೊಂದರೆ ಇಲ್ಲದೆ ಇಂಗ್ಲಿಷ್ ಭಾಷೆಯ ಮೂಲಕವೇ ಒಳ್ಳೆಯ ಶಿಕ್ಷಣ ಪಡೆಯುತ್ತಿದ್ದಾರೆ.
ಹಾಗೆ ಶಿಕ್ಷಣ ಪಡೆದ ಎಷ್ಟೋ ಜನರು ದೊಡ್ಡ ದೊಡ್ಡ ಬಹುರಾಷ್ಟ್ರೀಯ ಕಂಪನಿಗಳಲ್ಲಿ ಲಕ್ಷಾಂತರ ರೂಪಾಯಿ ಸಂಬಳ ಪಡೆಯುವ ಉದ್ಯೋಗ ಪಡೆದು ಅಮೆರಿಕ, ಬ್ರಿಟನ್, ಫ್ರಾನ್ಸ್, ಕೆನಡಾ ಮುಂತಾದ ದೇಶಗಳಲ್ಲಿ ಹಾಯಾಗಿದ್ದಾರೆ. ಇಲ್ಲವೇ ಬೆಂಗಳೂರಿನಂತ ಕಡೆ ಮುಸ್ಲಿಮರು ನಡೆಸುವ ವಿಪ್ರೋದಂತಹ ಐಟಿ ಕಂಪನಿಗಳಲ್ಲಿ ಒಳ್ಳೆಯ ಉದ್ಯೋಗ ಪಡೆದು ಬಿಂದಾಸ್ ಜೀವನ ನಡೆಸುತ್ತಾರೆ.
ಹೀಗಿರುವಾಗ ನಿಮ್ಮಂತಹ ಬಡ ದಲಿತ-ಹಿಂದುಳಿದವರನ್ನು ಧರ್ಮ ರಕ್ಷಣೆಯ ಹೆಸರಲ್ಲಿ ಕೇಸರಿ ಶಾಲು ಕೊಟ್ಟು, ಕೈಗೆ ತ್ರಿಶೂಲ, ತಲವಾರ್ ಕೊಟ್ಟು “ಮುಸ್ಲಿಂ ಹಿಜಾಬ್” ಭೂತ ತೋರಿಸಿ ನಿಮ್ಮ ಜೀವನಗಳನ್ನು ಬರ್ಬಾದ್ ಮಾಡಲು ಸಂಚು ನಡೆಸಿದ್ದಾರೆ. ಇದಕ್ಕೆ ಬಲಿಯಾಗುವ ಬಲಿಕುರಿಗಳಾಗುತ್ತೀರೋ ಅಥವಾ ಡಾ.ಬಿ.ಆರ್, ಅಂಬೇಡ್ಕರ್ ಹೇಳಿದ ಮಾರ್ಗದಲ್ಲಿ ನಡೆಯುತ್ತೀರೋ ನಿಮಗೇ ಬಿಟ್ಟಿದ್ದು.
ಇನ್ನು ಮುಸ್ಲಿಂ ಹೆಣ್ಣುಮಕ್ಕಳ ಹಿಜಾಬ್ ಕುರಿತು. ನೋಡಿ ಇಷ್ಟು ವರ್ಷ ಯಾರಿಗೂ ಸಮಸ್ಯೆ ಆಗದಿದ್ದ ವಿಷಯ ಈಗ ದೊಡ್ಡ ಸಮಸ್ಯೆಯಾಗಿದೆ. ಶಾಲೇ ಕಾಲೇಜುಗಳಿಗೆ ಎಲ್ಲಾ ಮುಸ್ಲಿಂ ಹೆಣ್ಣು ಮಕ್ಕಳು ಹಿಜಾಬ್ ಹಾಕುತ್ತಿರಲಿಲ್ಲ. ಕೆಲವರು ಹಾಕಿಕೊಂಡು ತರಗತಿಯಲ್ಲಿ ಕೂರುತ್ತಿದ್ದರು. ಉಡುಪಿ ಕಾಲೇಜಿನ ಮುಸ್ಲಿಂ ಹೆಣ್ಣು ಮಕ್ಕಳು ತಮ್ಮ ಯೂನಿಫಾರಂ ವೇಲ್ ನ್ನೇ ತಲೆಗೆ ಸುತ್ತಿಕೊಂಡು ಕೂರುತ್ತಿದ್ದರು.
ಇದರಿಂದ ಯಾರಿಗೆ ಸಮಸ್ಯೆ ಇತ್ತು? ಅವರೇನೂ ಸಮವಸ್ತ್ರ ಬೇಡ ಎಂದು ಹೇಳಿದ್ದರೆ? ಇಲ್ಲವಲ್ಲ? ನಮ್ಮ ಹಿಂದೂ ಹೆಣ್ಣುಮಕ್ಕಳೂ ಸಮವಸ್ತ್ರದ ಜೊತೆಗೆ ಹಿಂದೂ ಧರ್ಮದ ಸಂಕೇತಗಳಾದ ಹಣೆಕುಂಕುಮ/ಬಿಂದಿ ಇಟ್ಟುಕೊಂಡು, ಹೂ ಮುಡಿದುಕೊಂಡು, ಹಾಗೆಯೇ ನಮ್ಮ ಸರ್ಕಾರಿ, ಖಾಸಗಿ ಕಾಲೇಜುಗಳ ಹಿಂದೂ ಮಹಿಳಾ ಉಪನ್ಯಾಸಕರು ತಮ್ಮ ಧರ್ಮ ಸಂಪ್ರದಾಯದಂತೆ ಮಾಂಗಲ್ಯಸರ, ಕಾಲುಂಗುರ ಹಾಕಿಕೊಂಡೇ ಬರುತ್ತಿದ್ದಾರೆ. ಕ್ರೈಸ್ತರು ಕ್ರಾಸ್ ಸಂಕೇತ ಇಟ್ಟುಕೊಂಡು ಬರುತ್ತಾರೆ.
ವಿದ್ಯಾಭ್ಯಾಸ ಮಾಡಲು ಕಾಲೇಜಿಗೆ ಬರುವ ನಮಗೆ ಇವು ಮುಖ್ಯವಲ್ಲ. ಹಾಗೆ ನೋಡಿದರೆ ಇವೆಲ್ಲಾ ಭಾರತದ ಬಹುಸಂಸ್ಕೃತಿ ಪರಂಪರೆಗೆ ಅನುಗುಣವಾಗಿಯೇ ನಮ್ಮ ಶಾಲೇಕಾಲೇಜುಗಳನ್ನು “ಸರ್ವಜನಾಂಗದ ಶಾಂತಿಯ ತೋಟ, ರಸಿಕರ ಕಂಗಳ ಸೆಳೆಯುವ ನೋಟ” ವಾಗಿ ಮಾಡಿದೆ. ಇದು ಸಂವಿಧಾನ ಹೇಳುವ ಸರ್ವಧರ್ಮ ಸಮನ್ವಯ ತತ್ವಕ್ಕೆ ಅನುಗುಣವಾಗಿದೆ. ಕಾಲೇಜಿನ ಸಮವಸ್ತ್ರದ ಜೊತೆಗೆ ಅವರವರು ತಮ್ಮ ತಮ್ಮ ಸಂಪ್ರದಾಯದಂತೆ ಬಂದರೆ ಅದರಿಂದ ಯಾರಿಗೂ ನಷ್ಟವಿಲ್ಲ. ಹೀಗಿದ್ದರೂ ಇದನ್ನು ವಿವಾದ ಮಾಡಲಾಗಿದೆ. ಈಗ ವಿಷಯ ಕೋರ್ಟಿನ ಮೆಟ್ಟಿಲನ್ನೂ ಏರಿದೆ.
ಪ್ರೀತಿಯ ದಲಿತ-ಹಿಂದುಳಿದ ಸಮುದಾಯಗಳ ಸೋದರರೆ, ಮೇಲಿನ ಎಲ್ಲಾ ವಿಷಯಗಳನ್ನು ಓದಿಕೊಂಡು, ನಿಮ್ಮನ್ನೇ ನೀವು ಕೇಳಿಕೊಳ್ಳಿ. ನಿಮ್ಮ ಮತ್ತು ನಿಮ್ಮ ಕುಟುಂಬ, ಸಮುದಾಯಗಳ ಉತ್ತಮ ಭವಿಷ್ಯಕ್ಕೆ ಯಾವುದು ಮುಖ್ಯ? ನಿಮ್ಮ ಓದು, ವಿದ್ಯಾಭ್ಯಾಸ, ನಿಮ್ಮ ಪಠ್ಯಪುಸ್ತಕ, ಪೆನ್ನು, ಪರೀಕ್ಷೆ ಇವು ನಿಮಗೆ ಮುಖ್ಯವೋ ಅಥವಾ ನಿಮ್ಮ ಬದುಕನ್ನೇ ಬರ್ಬಾದು ಮಾಡಬಲ್ಲ ಕೆಲವರ ಹಿಡನ್ ಅಜೆಂಡಾವೋ? ಆಲೋಚಿಸಿ ತೀರ್ಮಾನ ತೆಗೆದುಕೊಳ್ಳಿ.
ನಿಮ್ಮ ಅಣ್ಣನಾಗಿ
ಹರ್ಷಕುಮಾರ್ ಕುಗ್ವೆ
ಪತ್ರಕರ್ತ, ಸಂಶೋಧಕ, ಸಾಮಾಜಿಕ ಕಾರ್ಯಕರ್ತ
( ಹರ್ಷಕುಮಾರ್ ಕುಗ್ವೆ ಅವರು ಫೆ.8ರಂದು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಪೋಸ್ಟ್ ಮಾಡಿದ ಬರಹವಿದು.)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ
ಭಾರತೀಯ ಚಿತ್ರಸಂಗೀತದ ಇತಿಹಾಸದಲ್ಲಿ ಕೆಲವೇ ಕೆಲವು ಧ್ವನಿಗಳು ಕಾಲವನ್ನು ಮೀರಿ ಅಮರತ್ವ ಪಡೆದಿವೆ. ಅಂತಹ ಅಮರ ಸ್ವರಗಳಲ್ಲಿ ಅತ್ಯಂತ ಪ್ರಕಾಶಮಾನವಾದ ಹೆಸರು ಎಸ್. ಜಾನಕಿ. ತಮ್ಮ ಅಪೂರ್ವ ಕಂಠಸಿರಿಯಿಂದ ಆರು ದಶಕಗಳಿಗೂ ಹೆಚ್ಚು ಕಾಲ ಕೋಟ್ಯಂತರ ಸಂಗೀತಾಭಿಮಾನಿಗಳ ಹೃದಯವನ್ನು ಗೆದ್ದಿದ್ದ ಈ ಮಹಾನ್ ಹಿನ್ನೆಲೆ ಗಾಯಕಿ ಇಹಲೋಕ ತ್ಯಜಿಸಿದ್ದಾರೆ. ಅವರ ನಿಧನವು ಕೇವಲ ಒಬ್ಬ ಗಾಯಕಿಯ ಅಗಲಿಕೆಯಲ್ಲ; ಭಾರತೀಯ ಸಂಗೀತ ಪರಂಪರೆಯ ಒಂದು ಮಹತ್ತರ ಯುಗದ ಅಂತ್ಯವಾಗಿದೆ.
ಸಂಗೀತವು ಭಾಷೆಯ ಎಲ್ಲೆಗಳನ್ನು ಮೀರಿ ಹೃದಯವನ್ನು ತಲುಪುವ ಮಾಧ್ಯಮ. ಆ ಸತ್ಯವನ್ನು ತಮ್ಮ ಗಾಯನದ ಮೂಲಕ ಸಾಬೀತುಪಡಿಸಿದ ಕಲಾವಿದೆ ಎಸ್. ಜಾನಕಿ. ಅವರು ಹಾಡಿದ ಸಾವಿರಾರು ಗೀತೆಗಳು ಇಂದಿಗೂ ಪ್ರೀತಿ, ವಿರಹ, ಭಕ್ತಿ, ಮಾತೃತ್ವ, ಸಂತೋಷ ಮತ್ತು ಬದುಕಿನ ಸೂಕ್ಷ್ಮ ಭಾವನೆಗಳಿಗೆ ಧ್ವನಿಯಾಗಿವೆ. ಅವರ ಕಂಠ ಕೇಳಿದ ಕ್ಷಣವೇ ಹಾಡಿನ ಪಾತ್ರ ಜೀವಂತವಾಗಿ ಕಣ್ಣೆದುರು ಮೂಡುತ್ತಿತ್ತು. ಅದೇ ಅವರ ಗಾಯನದ ಮಹತ್ವ.
ಸಾಮಾನ್ಯ ಕುಟುಂಬದಿಂದ ಸಂಗೀತ ಸಾಮ್ರಾಜ್ಯದವರೆಗೆ
1938ರ ಏಪ್ರಿಲ್ 23ರಂದು ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ರೆಪಲ್ಲೆ ಸಮೀಪ ಜನಿಸಿದ ಜಾನಕಿ, ಬಾಲ್ಯದಿಂದಲೇ ಸಂಗೀತದತ್ತ ಅತೀವ ಆಸಕ್ತಿ ಹೊಂದಿದ್ದರು. ಮನೆಯಲ್ಲಿದ್ದ ಸಂಗೀತದ ವಾತಾವರಣವೇ ಅವರ ಪ್ರತಿಭೆಗೆ ಮೊದಲ ಪ್ರೇರಣೆ. ಸಂಪ್ರದಾಯಬದ್ಧ ಸಂಗೀತ ಶಿಕ್ಷಣ ಸೀಮಿತವಾಗಿದ್ದರೂ, ದೇವರು ನೀಡಿದ ಸಹಜ ಕಂಠವೇ ಅವರನ್ನು ಅಪರೂಪದ ಗಾಯಕಿಯನ್ನಾಗಿ ರೂಪಿಸಿತು.
ಕುಟುಂಬದ ಬೆಂಬಲದೊಂದಿಗೆ ಅವರು ಆಗಿನ ಮದ್ರಾಸಿಗೆ ತೆರಳಿ ಹಿನ್ನೆಲೆ ಗಾಯನದಲ್ಲಿ ಅವಕಾಶ ಹುಡುಕಿದರು. ಆರಂಭದ ದಿನಗಳು ಸುಲಭವಾಗಿರಲಿಲ್ಲ. ಆದರೆ ಪ್ರತಿಭೆ, ಶ್ರಮ ಮತ್ತು ಸಂಗೀತದ ಮೇಲಿನ ಅಚಲ ನಿಷ್ಠೆ ಅವರನ್ನು ಬೇಗನೇ ಸಂಗೀತ ನಿರ್ದೇಶಕರ ಗಮನಕ್ಕೆ ತಂದಿತು. 1957ರಲ್ಲಿ ಆರಂಭವಾದ ಅವರ ಗಾಯನಯಾನ, ನಂತರ ಭಾರತದ ಸಂಗೀತ ಇತಿಹಾಸದಲ್ಲೇ ಅತ್ಯಂತ ದೀರ್ಘ ಹಾಗೂ ಯಶಸ್ವಿ ಪಯಣಗಳಲ್ಲಿ ಒಂದಾಗಿ ಬೆಳೆಯಿತು.
ಭಾಷೆಗಳ ಗಡಿಗಳನ್ನು ಮೀರಿ ಮೊಳಗಿದ ಧ್ವನಿ
ತೆಲುಗು, ಕನ್ನಡ, ತಮಿಳು, ಮಲಯಾಳಂ, ಹಿಂದಿ, ಒಡಿಯಾ, ತುಳು, ಕೊಂಕಣಿ ಸೇರಿದಂತೆ ಅನೇಕ ಭಾರತೀಯ ಭಾಷೆಗಳಲ್ಲಿ ಅವರು ಸಾವಿರಾರು ಹಾಡುಗಳನ್ನು ಹಾಡಿದರು. ವಿವಿಧ ಮೂಲಗಳ ಪ್ರಕಾರ ಅವರು 40 ಸಾವಿರಕ್ಕೂ ಅಧಿಕ ಗೀತೆಗಳಿಗೆ ಧ್ವನಿಯಾಗಿದ್ದಾರೆ.
ಪ್ರತಿ ಭಾಷೆಯ ಉಚ್ಚಾರಣೆಯನ್ನು ಅತ್ಯಂತ ಶ್ರದ್ಧೆಯಿಂದ ಕಲಿತು, ಆ ಭಾಷೆಯವರೇ ಹಾಡಿದಂತೆ ಹಾಡುವುದು ಅವರ ವಿಶೇಷತೆ. ಅದಕ್ಕಾಗಿಯೇ ಅವರು ಹಾಡಿದ ಗೀತೆಗಳನ್ನು ಯಾವ ರಾಜ್ಯದ ಜನರೂ ತಮ್ಮದೇ ಭಾಷೆಯ ಹಾಡುಗಳೆಂದು ಪ್ರೀತಿಸಿದರು. ಒಬ್ಬ ಗಾಯಕಿಗೆ ಇದಕ್ಕಿಂತ ದೊಡ್ಡ ಗೌರವ ಮತ್ತೊಂದಿಲ್ಲ.
ಕನ್ನಡಿಗರ ಮನದ ಜಾನಕಿ
ಕರ್ನಾಟಕದ ಸಂಗೀತಾಸಕ್ತರಿಗೆ ಎಸ್. ಜಾನಕಿ ಎಂದರೆ ವಿಶೇಷವಾದ ಭಾವನಾತ್ಮಕ ಬಂಧ. ಕನ್ನಡ ಚಿತ್ರರಂಗದ ಸುವರ್ಣಯುಗದ ನೂರಾರು ಅಮರಗೀತೆಗಳಿಗೆ ಅವರು ಜೀವ ತುಂಬಿದ್ದಾರೆ.
ಡಾ. ರಾಜ್‌ಕುಮಾರ್, ವಿಷ್ಣುವರ್ಧನ್, ಅಂಬರೀಷ್, ಶಂಕರ್ ನಾಗ್, ಅನಂತ್ ನಾಗ್, ರಮೇಶ್ ಅರವಿಂದ್ ಸೇರಿದಂತೆ ಹಲವು ತಲೆಮಾರಿನ ನಟ–ನಟಿಯರ ಭಾವನೆಗಳಿಗೆ ಅವರ ಧ್ವನಿಯೇ ಆತ್ಮವಾಗಿತ್ತು.
ವಿಜಯಭಾಸ್ಕರ್, ಜಿ.ಕೆ. ವೆಂಕಟೇಶ್, ರಾಜನ್–ನಾಗೇಂದ್ರ, ಉಪೇಂದ್ರ ಕುಮಾರ್, ಹಂಸಲೇಖ ಸೇರಿದಂತೆ ಕನ್ನಡದ ಶ್ರೇಷ್ಠ ಸಂಗೀತ ನಿರ್ದೇಶಕರೊಂದಿಗೆ ಅವರು ನೀಡಿದ ಹಾಡುಗಳು ಇಂದಿಗೂ ಸಂಗೀತಾಸಕ್ತರ ತುಟಿಗಳಲ್ಲಿ ಜೀವಂತವಾಗಿವೆ.
ಪ್ರೇಮಗೀತೆಗಳಾಗಲಿ, ಭಕ್ತಿಗೀತೆಗಳಾಗಲಿ, ಜಾನಪದ ಸೊಗಡಿನ ಹಾಡುಗಳಾಗಲಿ ಅಥವಾ ವಿರಹದ ಮೌನವನ್ನು ಹೇಳುವ ಮಧುರಗೀತೆಗಳಾಗಲಿ—ಜಾನಕಿ ಅವರ ಧ್ವನಿ ಪ್ರತಿಯೊಂದು ಭಾವಕ್ಕೂ ಹೊಸ ಅರ್ಥ ನೀಡುತ್ತಿತ್ತು.
ಇಳಯರಾಜಾ–ಜಾನಕಿ: ಸಂಗೀತದ ಅದ್ಭುತ ಜೋಡಿ
ತಮಿಳು ಚಿತ್ರರಂಗದಲ್ಲಿ ಸಂಗೀತ ನಿರ್ದೇಶಕ ಇಳಯರಾಜಾ ಮತ್ತು ಎಸ್. ಜಾನಕಿ ಅವರ ಸಂಗಮ ಭಾರತೀಯ ಚಿತ್ರಸಂಗೀತದ ಅತ್ಯಂತ ಯಶಸ್ವಿ ಜೋಡಿಗಳಲ್ಲಿ ಒಂದು.
ಇಳಯರಾಜಾ ಅವರ ಸಂಗೀತದ ಸೂಕ್ಷ್ಮ ಭಾವಗಳನ್ನು ಜಾನಕಿ ತಮ್ಮ ಧ್ವನಿಯಲ್ಲಿ ಜೀವಂತಗೊಳಿಸುತ್ತಿದ್ದರು. ಈ ಜೋಡಿಯ ಅನೇಕ ಗೀತೆಗಳು ಇಂದಿಗೂ ದಕ್ಷಿಣ ಭಾರತದ ಸಂಗೀತಾಭಿಮಾನಿಗಳ ನಿತ್ಯ ಸಂಗಾತಿಗಳಾಗಿವೆ.
ಅದೇ ರೀತಿ ಎಂ.ಎಸ್. ವಿಶ್ವನಾಥನ್, ಕೆ.ವಿ. ಮಹಾದೇವನ್, ಚಕ್ರವರ್ತಿ, ಹಂಸಲೇಖ, ರಾಜನ್–ನಾಗೇಂದ್ರ, ವಿಜಯಭಾಸ್ಕರ್ ಮೊದಲಾದ ದಿಗ್ಗಜರ ಸಂಗೀತಕ್ಕೂ ಅವರು ವಿಶಿಷ್ಟ ಕಂಠಸಿರಿ ನೀಡಿದ್ದಾರೆ.
ಧ್ವನಿಯೊಳಗಿದ್ದ ಸಾವಿರ ರೂಪಗಳು
ಎಸ್. ಜಾನಕಿ ಅವರ ಗಾಯನದ ಅತ್ಯಂತ ದೊಡ್ಡ ವೈಶಿಷ್ಟ್ಯವೆಂದರೆ ಧ್ವನಿಯ ರೂಪಾಂತರ. ಒಂದು ಹಾಡಿನಲ್ಲಿ ಮಗು ಮಾತನಾಡಿದಂತೆ ಹಾಡಬಲ್ಲರು; ಮತ್ತೊಂದು ಹಾಡಿನಲ್ಲಿ ವಯಸ್ಸಾದ ಮಹಿಳೆಯ ಭಾವನೆ ಮೂಡಿಸುತ್ತಿದ್ದರು. ಕೆಲವೊಮ್ಮೆ ಗ್ರಾಮೀಣ ಹುಡುಗಿಯ ಮುಗ್ಧತೆ, ಮತ್ತೊಮ್ಮೆ ನಗರ ಮಹಿಳೆಯ ಆತ್ಮವಿಶ್ವಾಸ, ಇನ್ನೊಮ್ಮೆ ತಾಯಿಯ ಮಮತೆ, ಮತ್ತೆ ಭಕ್ತೆಯ ಪ್ರಾರ್ಥನೆ—ಪ್ರತಿ ಭಾವಕ್ಕೂ ಬೇರೆ ಧ್ವನಿಯನ್ನು ನೀಡುವ ಸಾಮರ್ಥ್ಯ ಅವರಿಗೆ ಮಾತ್ರ ಸಾಧ್ಯವಾಗಿತ್ತು. ಅವರ ಧ್ವನಿ ಕೇವಲ ಸಂಗೀತವಲ್ಲ; ಅದು ಅಭಿನಯವೂ ಆಗಿತ್ತು.
ಶ್ರಮ, ಶಿಸ್ತು ಮತ್ತು ಪರಿಪೂರ್ಣತೆಯ ಪ್ರತೀಕ
ಒಂದು ಹಾಡನ್ನು ಹಾಡುವ ಮೊದಲು ಅದರ ಸಾಹಿತ್ಯವನ್ನು ಸಂಪೂರ್ಣ ಅರ್ಥೈಸಿಕೊಳ್ಳುವುದು ಅವರ ಅಭ್ಯಾಸ. ಉಚ್ಚಾರಣೆಯಲ್ಲಿ ಯಾವುದೇ ತಪ್ಪು ಆಗಬಾರದು ಎಂಬ ಕಾರಣಕ್ಕೆ ಹೊಸ ಭಾಷೆಗಳನ್ನು ಸಹ ಕಲಿಯುತ್ತಿದ್ದರು.
ರೆಕಾರ್ಡಿಂಗ್ ಸ್ಟುಡಿಯೋದಲ್ಲಿ ಸಮಯಪಾಲನೆ, ಶಿಸ್ತು ಹಾಗೂ ಸಂಗೀತದ ಮೇಲಿನ ಅಪಾರ ಗೌರವದಿಂದ ಅವರು ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು.
ಸಂಗೀತ ನಿರ್ದೇಶಕರು ಅನೇಕ ಬಾರಿ ಹೇಳಿದ್ದೇನಂದರೆ, ಜಾನಕಿ ಹಾಡನ್ನು ಒಮ್ಮೆ ಅರ್ಥ ಮಾಡಿಕೊಂಡರೆ ಅದನ್ನು ಮತ್ತೆ ವಿವರಿಸುವ ಅಗತ್ಯವೇ ಇರಲಿಲ್ಲ.
ಪ್ರಶಸ್ತಿಗಳಿಗಿಂತ ದೊಡ್ಡದು ಜನರ ಪ್ರೀತಿ
ಎಸ್. ಜಾನಕಿ ಅವರು ನಾಲ್ಕು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ. ವಿವಿಧ ರಾಜ್ಯ ಸರ್ಕಾರಗಳಿಂದ ಮೂವತ್ತಕ್ಕೂ ಅಧಿಕ ಅತ್ಯುತ್ತಮ ಹಿನ್ನೆಲೆ ಗಾಯಕಿ ಪ್ರಶಸ್ತಿಗಳು ಅವರಿಗೆ ಸಂದಿವೆ. ಆದರೆ ಅವರು ಎಂದಿಗೂ ಪ್ರಶಸ್ತಿಗಳಿಗಾಗಿ ಹಾಡಲಿಲ್ಲ. ಸಂಗೀತವೇ ಅವರ ಧ್ಯಾನ, ಗಾಯನವೇ ಅವರ ಪೂಜೆ.
ಪದ್ಮಭೂಷಣ ಪ್ರಶಸ್ತಿಯನ್ನು ಅವರು ವಿನಯಪೂರ್ವಕವಾಗಿ ನಿರಾಕರಿಸಿದ್ದು ದೇಶಾದ್ಯಂತ ಚರ್ಚೆಗೆ ಕಾರಣವಾಗಿತ್ತು. ತಮ್ಮ ಸಾಧನೆಗೆ ತಡವಾಗಿ ಗೌರವ ನೀಡಲಾಗಿದೆ ಎಂಬ ಭಾವನೆಯನ್ನು ಅವರು ಅತ್ಯಂತ ಗೌರವಯುತವಾಗಿ ವ್ಯಕ್ತಪಡಿಸಿದ್ದರು.
ಎಸ್.ಪಿ.ಬಿ.–ಜಾನಕಿ: ಮರೆಯಲಾಗದ ಸಂಗೀತಯಾನ
ಎಸ್.ಪಿ. ಬಾಲಸುಬ್ರಹ್ಮಣ್ಯಂ ಮತ್ತು ಎಸ್. ಜಾನಕಿ ಅವರ ಜೋಡಿ ಭಾರತೀಯ ಚಿತ್ರಸಂಗೀತದ ಅತ್ಯಂತ ಜನಪ್ರಿಯ ಗಾಯನ ಜೋಡಿಗಳಲ್ಲಿ ಒಂದು.
ಅವರಿಬ್ಬರು ಹಾಡಿದ ಸಾವಿರಾರು ಯುಗಲಗೀತೆಗಳು ಇಂದಿಗೂ ರೇಡಿಯೋಗಳಲ್ಲಿ, ಸಂಗೀತ ಕಾರ್ಯಕ್ರಮಗಳಲ್ಲಿ ಮತ್ತು ಅಭಿಮಾನಿಗಳ ನೆನಪುಗಳಲ್ಲಿ ಸದಾ ಕೇಳಿಸುತ್ತಿವೆ.ಇವರ ಗಾಯನದಲ್ಲಿ ಸ್ಪರ್ಧೆಯಿರಲಿಲ್ಲ; ಪರಸ್ಪರ ಪೂರಕವಾದ ಸಂಗೀತ ಮಾತ್ರ ಇತ್ತು.
ಸರಳತೆಯೇ ಅವರ ಅಲಂಕಾರ
ಅಸಂಖ್ಯಾತ ಪ್ರಶಸ್ತಿಗಳು, ಲಕ್ಷಾಂತರ ಅಭಿಮಾನಿಗಳು, ದೇಶವ್ಯಾಪಿ ಖ್ಯಾತಿ—ಇವೆಲ್ಲ ಇದ್ದರೂ ಎಸ್. ಜಾನಕಿ ಅತ್ಯಂತ ಸರಳ ಜೀವನ ನಡೆಸಿದರು.ವೇದಿಕೆಯಲ್ಲಿ ಎಂದಿಗೂ ಆಡಂಬರ ತೋರಲಿಲ್ಲ. ಸಂದರ್ಶನಗಳಲ್ಲಿಯೂ ತಮ್ಮ ಸಾಧನೆಗಿಂತ ಸಂಗೀತದ ಮಹತ್ವದ ಬಗ್ಗೆ ಹೆಚ್ಚು ಮಾತನಾಡುತ್ತಿದ್ದರು.ಹೊಸ ಗಾಯಕರಿಗೆ ಪ್ರೋತ್ಸಾಹ ನೀಡುವುದು, ಅವರನ್ನು ಮೆಚ್ಚುವುದು ಮತ್ತು ಸಂಗೀತವನ್ನು ಗೌರವಿಸುವಂತೆ ಸಲಹೆ ನೀಡುವುದು ಅವರ ಸ್ವಭಾವವಾಗಿತ್ತು.
ಹೊಸ ತಲೆಮಾರಿನಲ್ಲೂ ಜೀವಂತ ಧ್ವನಿ
ಡಿಜಿಟಲ್ ಸಂಗೀತದ ಯುಗದಲ್ಲಿಯೂ ಎಸ್. ಜಾನಕಿ ಅವರ ಹಾಡುಗಳ ಜನಪ್ರಿಯತೆ ಕಡಿಮೆಯಾಗಲಿಲ್ಲ. ಯೂಟ್ಯೂಬ್, ಸಂಗೀತ ಆ್ಯಪ್‌ಗಳು, ರಿಯಾಲಿಟಿ ಶೋಗಳು, ಸಾಮಾಜಿಕ ಜಾಲತಾಣಗಳು—ಎಲ್ಲೆಡೆ ಅವರ ಹಾಡುಗಳು ಹೊಸ ತಲೆಮಾರಿನ ಕಿವಿಗಳಿಗೆ ತಲುಪುತ್ತಲೇ ಇವೆ. ಇಂದಿನ ಅನೇಕ ಯುವ ಗಾಯಕ–ಗಾಯಕಿಯರು ತಮ್ಮ ಸಂಗೀತಯಾನದ ಪ್ರೇರಣೆಯಾಗಿ ಜಾನಕಿ ಅವರನ್ನು ಉಲ್ಲೇಖಿಸುತ್ತಾರೆ.
ಸಂಗೀತ ಲೋಕದ ಕಂಬನಿ
ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ದೇಶದಾದ್ಯಂತ ಸಂಗೀತ ಲೋಕದಲ್ಲಿ ಶೋಕದ ಛಾಯೆ ಆವರಿಸಿತು. ಚಿತ್ರರಂಗದ ಗಣ್ಯರು, ಸಂಗೀತ ನಿರ್ದೇಶಕರು, ಗಾಯಕ–ಗಾಯಕಿಯರು, ಸಾಹಿತ್ಯಿಕರು, ರಾಜಕೀಯ ನಾಯಕರು ಹಾಗೂ ಲಕ್ಷಾಂತರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಭಾವಪೂರ್ಣ ನಮನ ಸಲ್ಲಿಸಿದರು.
“ಒಂದು ಯುಗ ಮುಗಿಯಿತು”, “ಗಾನಕೋಗಿಲೆಯ ಧ್ವನಿ ಎಂದೆಂದಿಗೂ ಜೀವಂತ”, “ನಮ್ಮ ಜೀವನದ ನೆನಪುಗಳಿಗೆ ಹಿನ್ನೆಲೆ ಸಂಗೀತ ನೀಡಿದ ಧ್ವನಿ” ಎಂಬ ಮಾತುಗಳು ಎಲ್ಲೆಡೆ ಕೇಳಿಬಂದವು.
ಕನ್ನಡಿಗರ ನೆನಪಿನಲ್ಲಿ ಎಂದೆಂದಿಗೂ
ಕರ್ನಾಟಕದ ಮನೆಮನೆಗಳಲ್ಲೂ ಎಸ್. ಜಾನಕಿ ಅವರ ಹಾಡುಗಳು ಇಂದಿಗೂ ಬೆಳಗಿನ ಭಕ್ತಿಗೀತೆಗಳಾಗಿ, ಪ್ರೇಮಗೀತೆಗಳಾಗಿ, ಹಬ್ಬದ ಸಂಭ್ರಮವಾಗಿ, ಬದುಕಿನ ನೆನಪುಗಳಾಗಿ ಮೊಳಗುತ್ತಿವೆ.
ಅವರ ಧ್ವನಿ ಅನೇಕ ಕುಟುಂಬಗಳ ಭಾವನೆಗಳ ಒಂದು ಭಾಗವಾಗಿದೆ. ತಾಯಿಯ ನೆನಪಿನಲ್ಲಿ, ಪ್ರೀತಿಯ ನೆನಪಿನಲ್ಲಿ, ಬಾಲ್ಯದ ನೆನಪಿನಲ್ಲಿ, ಹಬ್ಬದ ಸಂಭ್ರಮದಲ್ಲಿ—ಎಲ್ಲೆಲ್ಲೂ ಜಾನಕಿ ಅವರ ಹಾಡುಗಳಿವೆ.
ಸ್ವರ ಮೌನವಾದರೂ…
ಕಾಲ ಬದಲಾಗಬಹುದು. ಸಂಗೀತದ ಶೈಲಿಗಳು ಬದಲಾಗಬಹುದು. ಹೊಸ ತಂತ್ರಜ್ಞಾನಗಳು ಬರಬಹುದು. ಆದರೆ ಭಾವನೆಗೆ ಜೀವ ತುಂಬುವ ಧ್ವನಿಗಳು ಅಪರೂಪ.
ಎಸ್. ಜಾನಕಿ ಅಂತಹ ಅಪರೂಪದ ಧ್ವನಿ. ಅವರ ದೇಹ ನಮ್ಮೊಂದಿಗಿಲ್ಲ. ಆದರೆ ಅವರು ಹಾಡಿದ ಪ್ರತಿಯೊಂದು ಗೀತೆ ಮುಂದಿನ ಹಲವು ತಲೆಮಾರುಗಳಿಗೂ ಬದುಕಿನ ಸಂಗಾತಿಯಾಗಿರುತ್ತದೆ. ಸಂಗೀತ ಇತಿಹಾಸವನ್ನು ಬರೆಯುವಾಗ ಅವರ ಹೆಸರನ್ನು ಬಿಟ್ಟು ಮುಂದೆ ಸಾಗುವುದು ಅಸಾಧ್ಯ. ಮರಣವು ಒಬ್ಬ ವ್ಯಕ್ತಿಯನ್ನು ಮಾತ್ರ ಕಸಿದುಕೊಳ್ಳಬಹುದು; ಅವರು ಸೃಷ್ಟಿಸಿದ ಕಲೆಯನ್ನು ಅಲ್ಲ.
ಎಸ್. ಜಾನಕಿ ಅವರ ಸ್ವರ ಇಂದು ಮೌನವಾಗಿದೆ. ಆದರೆ ಅವರು ಹಾಡಿದ ಸಾವಿರಾರು ಗೀತೆಗಳು ಭಾರತೀಯ ಸಂಗೀತಾಕಾಶದಲ್ಲಿ ಶಾಶ್ವತವಾಗಿ ಪ್ರತಿಧ್ವನಿಸುತ್ತಲೇ ಇರುತ್ತವೆ.
ಅವರ ಕಂಠಸಿರಿ ಕಾಲವನ್ನು ಮೀರಿದೆ.
ಅವರ ಸಂಗೀತ ತಲೆಮಾರುಗಳನ್ನು ಮೀರಿದೆ.
ಅವರ ನೆನಪು ಎಂದಿಗೂ ಅಳಿಯದು.
ಸ್ವರ ಮೌನವಾಗಿದೆ… ಆದರೆ ಸಂಗೀತ ಅಮರವಾಗಿದೆ. ಅದೇ ಎಸ್. ಜಾನಕಿ ಅವರ ಶಾಶ್ವತ ಪರಂಪರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.
ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು
ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.
ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.
ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.
ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.
ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.
ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.
ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.
ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.
ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.
ಆಗಸ್ಟ್ 30ರೊಳಗೆ ಬರಹಗಳನ್ನು ಇ-ಮೇಲ್: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.
ಕಚೇರಿ ವಿಳಾಸ
ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಕೆಪಿಸಿಸಿಯ ನೂತನ ಸಾರಥಿ ಬಿ.ಕೆ. ಹರಿಪ್ರಸಾದ್ ರಾಜಕೀಯ ಪಯಣ
ಕರ್ನಾಟಕ ಕಾಂಗ್ರೆಸ್ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದಾಗಿ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಮುಖ್ಯಮಂತ್ರಿ ಹುದ್ದೆಯನ್ನು ವಹಿಸಿಕೊಂಡ ಬಳಿಕ ಡಿ.ಕೆ. ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಈ ಮಹತ್ವದ ಜವಾಬ್ದಾರಿಯನ್ನು ಬಿ.ಕೆ. ಹರಿಪ್ರಸಾದ್ ಅವರಿಗೆ ನೀಡಿದೆ.
ಈ ನೇಮಕ ಕೇವಲ ಸಂಘಟನಾತ್ಮಕ ಬದಲಾವಣೆಯಲ್ಲ. ಕರ್ನಾಟಕ ಕಾಂಗ್ರೆಸ್‌ನ ಮುಂದಿನ ರಾಜಕೀಯ ದಿಕ್ಕು, ಪಕ್ಷದ ಒಳಾಂಗಣ ಸಮತೋಲನ ಮತ್ತು ಭವಿಷ್ಯದ ಚುನಾವಣಾ ತಂತ್ರಗಳಿಗೆ ಇದು ಪ್ರಮುಖ ಸೂಚನೆಯಾಗಿದೆ. ಹಲವು ದಶಕಗಳ ರಾಜಕೀಯ ಅನುಭವ, ಸಂಘಟನಾ ಕೌಶಲ್ಯ ಮತ್ತು ಹೈಕಮಾಂಡ್‌ಗೆ ನಿಕಟ ಸಂಪರ್ಕ ಹೊಂದಿರುವ ಹರಿಪ್ರಸಾದ್ ಅವರು ಈಗ ರಾಜ್ಯ ಕಾಂಗ್ರೆಸ್‌ನ ನೂತನ ಸಾರಥಿಯಾಗಿ ಹೊರಹೊಮ್ಮಿದ್ದಾರೆ.
ಆರಂಭಿಕ ಜೀವನ ಮತ್ತು ಶಿಕ್ಷಣ
ಬಿ.ಕೆ. ಹರಿಪ್ರಸಾದ್ ಅವರು 1954ರ ಜುಲೈ 29ರಂದು ಬೆಂಗಳೂರಿನಲ್ಲಿ ಜನಿಸಿದರು. ತಂದೆ ಎ. ಕೆಂಪಯ್ಯ ಹಾಗೂ ತಾಯಿ ಕೆ. ಗುಣಾವತಿ. ಬಾಲ್ಯದಿಂದಲೇ ಸಾಮಾಜಿಕ ಮತ್ತು ರಾಜಕೀಯ ಚಟುವಟಿಕೆಗಳತ್ತ ಆಸಕ್ತಿ ಹೊಂದಿದ್ದ ಅವರು ಬೆಂಗಳೂರಿನ ಎಂ.ಇ.ಎಸ್. ಕಾಲೇಜಿನಲ್ಲಿ ಬಿ.ಕಾಂ ಪದವಿ ಶಿಕ್ಷಣ ಪಡೆದರು. ವಿದ್ಯಾರ್ಥಿ ಜೀವನದಲ್ಲಿಯೇ ಕಾಂಗ್ರೆಸ್ ಚಟುವಟಿಕೆಗಳೊಂದಿಗೆ ಗುರುತಿಸಿಕೊಂಡ ಅವರು ಮುಂದೆ ಪೂರ್ಣಾವಧಿ ರಾಜಕಾರಣಿಯಾಗಿ ಬೆಳೆದರು.
ವಿದ್ಯಾರ್ಥಿ ರಾಜಕಾರಣದಿಂದ ರಾಷ್ಟ್ರೀಯ ಮಟ್ಟದ ನಾಯಕತ್ವದವರೆಗೆ
ಹರಿಪ್ರಸಾದ್ ಅವರ ರಾಜಕೀಯ ಬದುಕು ವಿದ್ಯಾರ್ಥಿ ಕಾಂಗ್ರೆಸ್ ಮತ್ತು ಯುವ ಕಾಂಗ್ರೆಸ್ ಸಂಘಟನೆಗಳಿಂದ ಆರಂಭವಾಯಿತು. ಸಂಘಟನಾ ರಾಜಕಾರಣದಲ್ಲಿ ತೋರಿದ ಸಾಮರ್ಥ್ಯದಿಂದ ಅವರು ಶೀಘ್ರದಲ್ಲೇ ಪಕ್ಷದ ಹಿರಿಯ ನಾಯಕರ ಗಮನ ಸೆಳೆದರು.
ರಾಜ್ಯ ಮಟ್ಟದಲ್ಲಿ ಮಾತ್ರವಲ್ಲದೆ ರಾಷ್ಟ್ರೀಯ ಮಟ್ಟದಲ್ಲೂ ಕಾಂಗ್ರೆಸ್ ಸಂಘಟನೆಯಲ್ಲಿ ಪ್ರಮುಖ ಜವಾಬ್ದಾರಿಗಳನ್ನು ನಿರ್ವಹಿಸಿದ ಅವರು, ಹಲವು ರಾಜ್ಯಗಳ ಕಾಂಗ್ರೆಸ್ ವ್ಯವಹಾರಗಳ ಉಸ್ತುವಾರಿಯಾಗಿ ಕೆಲಸ ಮಾಡಿದ್ದಾರೆ. ಪಕ್ಷದ ಹೈಕಮಾಂಡ್‌ನೊಂದಿಗೆ ಉತ್ತಮ ಸಂಪರ್ಕ ಹೊಂದಿರುವ ನಾಯಕರಲ್ಲಿ ಹರಿಪ್ರಸಾದ್ ಪ್ರಮುಖರು ಎಂದು ಪರಿಗಣಿಸಲಾಗುತ್ತದೆ.
ಬಿ.ಕೆ. ಹರಿಪ್ರಸಾದ್ ಅವರು ಹಲವು ಬಾರಿ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. 1990ರಿಂದಲೇ ಅವರು ರಾಷ್ಟ್ರೀಯ ರಾಜಕಾರಣದಲ್ಲಿ ಸಕ್ರಿಯ ಪಾತ್ರ ವಹಿಸುತ್ತಾ ಬಂದಿದ್ದಾರೆ. ರಾಜ್ಯಸಭೆಯಲ್ಲಿ ಕಾಂಗ್ರೆಸ್ ಪರವಾಗಿ ಹಲವು ವಿಷಯಗಳ ಬಗ್ಗೆ ಧ್ವನಿ ಎತ್ತಿದ ಅವರು ಸಂಸತ್ತಿನ ಚರ್ಚೆಗಳಲ್ಲಿ ಗಮನ ಸೆಳೆದಿದ್ದರು.
ಅವರು ರಾಜ್ಯಸಭೆಯ ಉಪಸಭಾಪತಿ ಸ್ಥಾನಕ್ಕೆ ಪ್ರತಿಪಕ್ಷಗಳ ಒಕ್ಕೂಟದ ಅಭ್ಯರ್ಥಿಯಾಗಿಯೂ ಸ್ಪರ್ಧಿಸಿದ್ದರು. ಆ ಸಂದರ್ಭದಲ್ಲಿ ಎನ್‌ಡಿಎ ಅಭ್ಯರ್ಥಿ ಹರಿವಂಶ್ ನಾರಾಯಣ್ ಸಿಂಗ್ ವಿರುದ್ಧ ಪೈಪೋಟಿ ನಡೆಸಿದ್ದರು. ಸೋಲು ಕಂಡಿದ್ದರೂ ರಾಷ್ಟ್ರೀಯ ರಾಜಕೀಯದಲ್ಲಿ ಅವರ ಸ್ಥಾನಮಾನ ಮತ್ತಷ್ಟು ಬಲವತ್ತಾಯಿತು.
1999ರ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಬಿಜೆಪಿಯ ಹಿರಿಯ ನಾಯಕ ಅನಂತ್ ಕುಮಾರ್ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಆ ಚುನಾವಣೆಯಲ್ಲಿ ಜಯ ಸಾಧಿಸಲು ಸಾಧ್ಯವಾಗದಿದ್ದರೂ ಅವರು ಕಾಂಗ್ರೆಸ್‌ನ ಪ್ರಮುಖ ಮುಖವಾಗಿ ಗುರುತಿಸಿಕೊಂಡರು.
ಸಂಘಟನಾ ರಾಜಕಾರಣದಲ್ಲಿ ಹೆಚ್ಚು ಸಕ್ರಿಯರಾಗಿದ್ದ ಕಾರಣ, ಚುನಾವಣಾ ಗೆಲುವಿಗಿಂತ ಪಕ್ಷ ನಿರ್ಮಾಣದಲ್ಲಿ ಅವರ ಪಾತ್ರವೇ ಹೆಚ್ಚು ಗಮನ ಸೆಳೆಯಿತು.
ಕಾಂಗ್ರೆಸ್ ಸಂಘಟನೆಯಲ್ಲಿ ‘ಟಾಸ್ಕ್ ಮಾಸ್ಟರ್’
ಕಾಂಗ್ರೆಸ್ ಪಕ್ಷದಲ್ಲಿ ಹರಿಪ್ರಸಾದ್ ಅವರನ್ನು ಸಂಘಟನಾ ತಜ್ಞ ಎಂದು ಕರೆಯಲಾಗುತ್ತದೆ. ಪಕ್ಷ ಎದುರಿಸಿದ ಸಂಕಷ್ಟದ ಸಂದರ್ಭಗಳಲ್ಲಿ ಹಲವು ರಾಜ್ಯಗಳಲ್ಲಿ ಜವಾಬ್ದಾರಿಗಳನ್ನು ನಿರ್ವಹಿಸಿ ಸಂಘಟನೆಯನ್ನು ಬಲಪಡಿಸಿದ ಅನುಭವ ಅವರಿಗೆ ಇದೆ.
ಇತ್ತೀಚಿನ ಅವಧಿಯಲ್ಲಿ ಅವರು ಹರಿಯಾಣ ಕಾಂಗ್ರೆಸ್ ಉಸ್ತುವಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ರಾಜ್ಯ ರಾಜಕೀಯದ ಸೂಕ್ಷ್ಮ ಸಮೀಕರಣಗಳನ್ನು ಅರ್ಥಮಾಡಿಕೊಳ್ಳುವ ಸಾಮರ್ಥ್ಯ ಮತ್ತು ಕಾರ್ಯಕರ್ತರೊಂದಿಗೆ ನೇರ ಸಂಪರ್ಕ ಸಾಧಿಸುವ ಶೈಲಿ ಅವರ ವಿಶೇಷತೆ ಎಂದು ಪಕ್ಷದ ನಾಯಕರು ಹೇಳುತ್ತಾರೆ.
ಕರ್ನಾಟಕ ಕಾಂಗ್ರೆಸ್‌ನಲ್ಲಿ ಹರಿಪ್ರಸಾದ್ ಅವರು ಹಲವು ದಶಕಗಳಿಂದ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದಾರೆ. ಪಕ್ಷದ ಒಳಗಿನ ಭಿನ್ನಾಭಿಪ್ರಾಯಗಳ ಸಂದರ್ಭದಲ್ಲೂ ಅವರು ಸಮತೋಲನ ಸಾಧಿಸುವ ನಾಯಕನಾಗಿ ಕಾಣಿಸಿಕೊಂಡಿದ್ದಾರೆ.
ವಿಧಾನ ಪರಿಷತ್ ಸದಸ್ಯರಾಗಿ ಕಾರ್ಯನಿರ್ವಹಿಸಿರುವ ಅವರು, 2022 ರಿಂದ 2023ರವರೆಗೆ ಕರ್ನಾಟಕ ವಿಧಾನ ಪರಿಷತ್ತಿನ ಪ್ರತಿಪಕ್ಷ ನಾಯಕರಾಗಿಯೂ ಸೇವೆ ಸಲ್ಲಿಸಿದ್ದಾರೆ. ಸರ್ಕಾರದ ನೀತಿಗಳ ವಿರುದ್ಧ ಪರಿಣಾಮಕಾರಿ ಹೋರಾಟ ನಡೆಸುವ ಮೂಲಕ ಅವರು ಗಮನ ಸೆಳೆದಿದ್ದರು.
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ
2026ರಲ್ಲಿ ಕರ್ನಾಟಕ ರಾಜಕೀಯದಲ್ಲಿ ನಡೆದ ನಾಯಕತ್ವ ಬದಲಾವಣೆಯ ಬಳಿಕ ಮುಖ್ಯಮಂತ್ರಿ ಹುದ್ದೆಯನ್ನು ಡಿ.ಕೆ. ಶಿವಕುಮಾರ್ ವಹಿಸಿಕೊಂಡರು. ಇದರ ಪರಿಣಾಮವಾಗಿ ಕೆಪಿಸಿಸಿ ಅಧ್ಯಕ್ಷ ಸ್ಥಾನ ತೆರವಾಗಿತ್ತು. ಪಕ್ಷದೊಳಗೆ ಹಲವು ನಾಯಕರ ಹೆಸರುಗಳು ಕೇಳಿಬಂದಿದ್ದರೂ ಅಂತಿಮವಾಗಿ ಕಾಂಗ್ರೆಸ್ ಹೈಕಮಾಂಡ್ ಬಿ.ಕೆ. ಹರಿಪ್ರಸಾದ್ ಅವರನ್ನು ಆಯ್ಕೆ ಮಾಡಿತು.
ಈ ನಿರ್ಧಾರವನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಹೈಕಮಾಂಡ್ ಸಂಘಟನಾ ದೃಷ್ಟಿಯಿಂದ ಮಹತ್ವದ ಹೆಜ್ಜೆಯಾಗಿ ಪರಿಗಣಿಸಿದೆ. ಪಕ್ಷದ ಸರ್ಕಾರ ಮತ್ತು ಪಕ್ಷ ಸಂಘಟನೆಯ ನಡುವೆ ಸಮತೋಲನ ಕಾಯ್ದುಕೊಳ್ಳಲು ಹರಿಪ್ರಸಾದ್ ಅವರ ಅನುಭವ ನೆರವಾಗಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.
ಬಿ.ಕೆ. ಹರಿಪ್ರಸಾದ್ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡುವ ಹಿಂದೆ ಹಲವು ರಾಜಕೀಯ ಕಾರಣಗಳಿವೆ. ಮೊದಲನೆಯದಾಗಿ, ಅವರು ಯಾವುದೇ ಒಂದು ಗುಂಪಿಗೆ ಸೀಮಿತವಾಗದ ನಾಯಕ ಎಂಬ ಚಿತ್ರಣ ಹೊಂದಿದ್ದಾರೆ. ಎರಡನೆಯದಾಗಿ, ಸಂಘಟನಾ ಅನುಭವ ಅಪಾರವಾಗಿದೆ. ಮೂರನೆಯದಾಗಿ, ಹೈಕಮಾಂಡ್‌ಗೆ ಅತ್ಯಂತ ವಿಶ್ವಾಸಾರ್ಹ ನಾಯಕರಲ್ಲಿ ಒಬ್ಬರು. ನಾಲ್ಕನೆಯದಾಗಿ, ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳು ಮತ್ತು ಮುಂದಿನ ವಿಧಾನಸಭಾ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವ ಸಾಮರ್ಥ್ಯ ಅವರಿಗಿದೆ ಎಂದು ಕಾಂಗ್ರೆಸ್ ನಾಯಕತ್ವ ನಂಬಿದೆ.
ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಅವರ ಮುಂದಿರುವ ಸವಾಲುಗಳು ಸಣ್ಣದಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದರೂ ಸಂಘಟನೆಯನ್ನು ಸದೃಢವಾಗಿಡುವುದು ದೊಡ್ಡ ಜವಾಬ್ದಾರಿ. ಕಾರ್ಯಕರ್ತರ ಅಸಮಾಧಾನ, ಸಚಿವ ಸ್ಥಾನಾಕಾಂಕ್ಷಿಗಳ ಒತ್ತಡ, ಪ್ರಾದೇಶಿಕ ಸಮೀಕರಣಗಳು ಮತ್ತು ಜಾತಿ ಆಧಾರಿತ ರಾಜಕೀಯ ಬೇಡಿಕೆಗಳನ್ನು ಸಮತೋಲನಗೊಳಿಸಬೇಕಾಗಿದೆ.
ಇದರ ಜೊತೆಗೆ ಬಿಜೆಪಿ ಹಾಗೂ ಜೆಡಿಎಸ್ ವಿರುದ್ಧ ಕಾಂಗ್ರೆಸ್ ಸಂಘಟನೆಯನ್ನು ನಿರಂತರ ಚಟುವಟಿಕೆಯಲ್ಲಿ ಇರಿಸುವುದು ಅವರ ಪ್ರಮುಖ ಗುರಿಯಾಗಲಿದೆ.
ಹರಿಪ್ರಸಾದ್ ಅವರು ಹೆಚ್ಚು ಪ್ರಚಾರಪ್ರಿಯ ರಾಜಕಾರಣಿಯಲ್ಲ. ಸಂಘಟನೆಯೊಳಗೆ ಕೆಲಸ ಮಾಡುವ ನಾಯಕ ಎಂಬ ಹೆಗ್ಗಳಿಕೆ ಅವರಿಗೆ ಇದೆ. ಕಾರ್ಯಕರ್ತರೊಂದಿಗೆ ನೇರ ಸಂಪರ್ಕ, ಹಂತ ಹಂತವಾಗಿ ಸಮಸ್ಯೆಗಳಿಗೆ ಪರಿಹಾರ ಮತ್ತು ತಾಳ್ಮೆಯ ರಾಜಕೀಯ ಅವರ ಕಾರ್ಯಶೈಲಿಯ ಮುಖ್ಯ ಲಕ್ಷಣಗಳು.
ಅವರ ರಾಜಕೀಯ ಜೀವನದಲ್ಲಿ ಅನೇಕ ಏರಿಳಿತಗಳು ಬಂದಿದ್ದರೂ ಪಕ್ಷದ ಮೇಲಿನ ನಿಷ್ಠೆ ಪ್ರಶ್ನಾತೀತವಾಗಿದೆ. ಇದೇ ಕಾರಣಕ್ಕೆ ಕಾಂಗ್ರೆಸ್ ಹೈಕಮಾಂಡ್ ಹಲವು ಬಾರಿ ಅವರಿಗೆ ಪ್ರಮುಖ ಜವಾಬ್ದಾರಿಗಳನ್ನು ನೀಡಿದೆ.
ರಾಜಕೀಯದ ಜೊತೆಗೆ ಸರಳ ಜೀವನಶೈಲಿಗೆ ಹೆಸರುವಾಸಿಯಾಗಿರುವ ಹರಿಪ್ರಸಾದ್ ಅವರು ಉಷಾ ಅವರೊಂದಿಗೆ ದಾಂಪತ್ಯ ಜೀವನ ನಡೆಸುತ್ತಿದ್ದಾರೆ. ಅವರಿಗೆ ಒಬ್ಬ ಪುತ್ರಿಯಿದ್ದಾರೆ. ಕುಟುಂಬ ಜೀವನವನ್ನು ರಾಜಕೀಯದಿಂದ ಸಾಧ್ಯವಾದಷ್ಟು ದೂರ ಇಡುವ ನಾಯಕ ಎಂಬ ಹೆಸರನ್ನು ಅವರು ಗಳಿಸಿದ್ದಾರೆ.
ಭವಿಷ್ಯದ ರಾಜಕೀಯ ಪಾತ್ರ
ಕೆಪಿಸಿಸಿ ಅಧ್ಯಕ್ಷ ಸ್ಥಾನ ಹರಿಪ್ರಸಾದ್ ಅವರ ರಾಜಕೀಯ ಜೀವನದ ಮತ್ತೊಂದು ಮಹತ್ವದ ಅಧ್ಯಾಯವಾಗಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸರ್ಕಾರ ಮತ್ತು ಪಕ್ಷ ಸಂಘಟನೆಯ ನಡುವೆ ಸಮನ್ವಯ ಸಾಧಿಸುವಲ್ಲಿ ಅವರ ಪಾತ್ರ ನಿರ್ಣಾಯಕವಾಗಲಿದೆ.
ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷದ ರಾಜ್ಯ ಮಟ್ಟದ ತಂತ್ರ ರೂಪಿಸುವುದು, ಕಾರ್ಯಕರ್ತರ ಬಲವರ್ಧನೆ, ಚುನಾವಣಾ ಸಿದ್ಧತೆ ಮತ್ತು ಹೈಕಮಾಂಡ್‌ನೊಂದಿಗೆ ಸಮನ್ವಯ ಸಾಧಿಸುವ ಪ್ರಮುಖ ಹೊಣೆಗಾರಿಕೆ ಅವರ ಮೇಲಿದೆ. ಈ ಎಲ್ಲ ಸವಾಲುಗಳನ್ನು ಅವರು ಹೇಗೆ ನಿಭಾಯಿಸುತ್ತಾರೆ ಎಂಬುದರ ಮೇಲೆ ಕರ್ನಾಟಕ ಕಾಂಗ್ರೆಸ್‌ನ ಮುಂದಿನ ರಾಜಕೀಯ ಭವಿಷ್ಯ ಬಹುಮಟ್ಟಿಗೆ ಅವಲಂಬಿತವಾಗಿದೆ.
ಸುಮಾರು ನಾಲ್ಕು ದಶಕಗಳಿಗಿಂತಲೂ ಹೆಚ್ಚು ಕಾಲ ಕಾಂಗ್ರೆಸ್ ಸಂಘಟನೆಯಲ್ಲಿ ದುಡಿದಿರುವ ಬಿ.ಕೆ. ಹರಿಪ್ರಸಾದ್ ಇಂದು ಕರ್ನಾಟಕ ಕಾಂಗ್ರೆಸ್‌ನ ಅತ್ಯುನ್ನತ ಸಂಘಟನಾ ಹುದ್ದೆಯನ್ನು ಅಲಂಕರಿಸಿದ್ದಾರೆ. ವಿದ್ಯಾರ್ಥಿ ರಾಜಕಾರಣದಿಂದ ಆರಂಭವಾದ ಅವರ ಪಯಣ ರಾಜ್ಯಸಭೆ, ರಾಷ್ಟ್ರೀಯ ಸಂಘಟನೆ, ವಿಧಾನ ಪರಿಷತ್ ಮತ್ತು ಇದೀಗ ಕೆಪಿಸಿಸಿ ಅಧ್ಯಕ್ಷ ಸ್ಥಾನವರೆಗೆ ತಲುಪಿದೆ.
ಅನುಭವ, ಸಂಘಟನಾ ಕೌಶಲ್ಯ, ರಾಜಕೀಯ ಪ್ರೌಢಿಮೆ ಮತ್ತು ಪಕ್ಷದ ಮೇಲಿನ ನಿಷ್ಠೆ ಎಂಬ ನಾಲ್ಕು ಅಂಶಗಳು ಅವರ ರಾಜಕೀಯ ವ್ಯಕ್ತಿತ್ವದ ಪ್ರಮುಖ ಗುರುತುಗಳಾಗಿವೆ. ಕರ್ನಾಟಕ ಕಾಂಗ್ರೆಸ್ ಹೊಸ ರಾಜಕೀಯ ಹಾದಿಯಲ್ಲಿ ಸಾಗುತ್ತಿರುವ ಈ ಸಂದರ್ಭದಲ್ಲಿ, ಬಿ.ಕೆ. ಹರಿಪ್ರಸಾದ್ ಅವರ ನಾಯಕತ್ವ ಪಕ್ಷಕ್ಕೆ ಹೊಸ ಶಕ್ತಿ ತುಂಬುತ್ತದೆಯೇ ಎಂಬುದನ್ನು ರಾಜ್ಯದ ರಾಜಕೀಯ ಕುತೂಹಲದಿಂದ ಗಮನಿಸುತ್ತಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243



