ದಿನದ ಸುದ್ದಿ
ಅನ್ನ ಭಾಗ್ಯ ಯೋಜನೆ : ಒಂದು ಕೆಜಿ ಅಕ್ಕಿ ಖರೀದಿಗೆ ರಾಜ್ಯ ಸರ್ಕಾರ ಎಫ್ ಸಿ ಐ ಗೆ ಕೊಡುವ ಹಣ ಎಷ್ಟು ಗೊತ್ತಾ..?
ಸುದ್ದಿದಿನ,ದ.ಕ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿವಿಧ ಪ್ರಕರಣಗಳಲ್ಲಿ ಮೃತಪಟ್ಟ ಕುಟುಂಬದವರಿಗೆ ಪರಿಹಾರ ವಿತರಿಸಿದರು.
ನ್ಯಾಷನಲ್ ಕೋ-ಆಪರೇಟಿವ್ ಕನ್ಸೂಮರ್ಸ್ ಫೆಡರೇಷನ್ ಎನ್‌ಸಿಸಿಎಫ್, ನ್ಯಾಷನಲ್ ಅಗ್ರಿಕಲ್ಚರಲ್ ಕೋ-ಆಪರೇಟಿವ್ ಮಾರ್ಕೆಟಿಂಗ್ ಫೆಡರೇಷನ್ ಹಾಗೂ ಕೇಂದ್ರೀಯ ಭಂಡಾರ, ಈ ಮೂರು ಸಂಸ್ಥೆಗಳು ಭಾರತ ಸರ್ಕಾರಕ್ಕೆ ಸೇರಿದ್ದು, ಈ ಮೂರು ಸಂಸ್ಥಗಳಿಂದ ಅಕ್ಕಿ ಪಡೆಯಲು ದರಪಟ್ಟಿ ಸಲ್ಲಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಭಾರತೀಯ ಆಹಾರ ಮಂಡಳಿಯಿಂದ 34 ರೂಪಾಯಿ ಅಕ್ಕಿ 2.60ರೂಪಾಯಿ ಸಾಗಾಣಿಕೆ ವೆಚ್ಚ ಸೇರಿ ಒಂದು ಕೆ.ಜಿ. ಅಕ್ಕಿಗೆ ಒಟ್ಟು 36.60ರೂಪಾಯಿ ವೆಚ್ಚ ತಗಲುತ್ತದೆ. ಈ ಮೂರು ಸಂಸ್ಥೆಗಳು ನಮೂದಿಸುವ ದರ, ಸರಬರಾಜು ಮಾಡುವ ಪ್ರಮಾಣಗಳ ವಿವರ ಪಡೆಯಲಾಗುವುದು ಮತ್ತು ಟೆಂಡರ್ ಮೂಲಕ ಅಕ್ಕಿ ಪಡೆಯಲೂ ಕ್ರಮ ಕೈಗೊಳ್ಳಲಾಗುವುದು ಎಂದರು.
ಅನ್ನಭಾಗ್ಯ ಯೋಜನೆಯಡಿ 10 ಕೆಜಿ ಅಕ್ಕಿ ವಿತರಿಸಲು ಒಂದು ತಿಂಗಳಿಗೆ 840 ಕೋಟಿ ರೂಪಾಯಿ. ವೆಚ್ಚ ತಗುಲುತ್ತದೆ. ವರ್ಷಕ್ಕೆ 10 ಸಾವಿರದ 92 ಕೋಟಿ ವೆಚ್ಚವಾಗಲಿದ್ದು. ಸರ್ಕಾರ ಈ ವೆಚ್ಚವನ್ನು ಭರಿಸಿ ಅಕ್ಕಿಯನ್ನು ವಿತರಿಸಲು ಸಿದ್ಧವಿದೆ. ಸಾಕಷ್ಟು ಅಕ್ಕಿಯ ದಾಸ್ತಾನು ಲಭ್ಯವಿದ್ದರೂ ಕೇಂದ್ರ ಅಕ್ಕಿ ನೀಡಲು ತಾರತಮ್ಯ ತೋರುತ್ತಿದೆ. ರಾಜ್ಯದಲ್ಲಿ ರಾಗಿ, ಜೋಳವನ್ನು 6 ತಿಂಗಳವರೆಗೆ ತಲಾ 2 ಕೆಜಿ ಕೊಡುವಷ್ಟು ಮಾತ್ರ ದಾಸ್ತಾನು ಲಭ್ಯವಿದೆ. ಹಳೇ ಮೈಸೂರು ಭಾಗದ ಜನರಿಗೆ 2ಕೆಜಿ ರಾಗಿ ಹಾಗೂ ಕಲ್ಯಾಣ ಕರ್ನಾಟಕ ಹಾಗೂ ಮುಂಬೈ ಕರ್ನಾಟಕದ ಜನರಿಗೆ 2 ಕೆಜಿ ಜೋಳ ನೀಡಬಹುದು. ಇನ್ನುಳಿದ 3 ಕೆಜಿ ಅಕ್ಕಿಯನ್ನು ರಾಜ್ಯದ ಜನರಿಗೆ ನೀಡಬೇಕಾಗುತ್ತದೆ ಎಂದರು.
ಪಂಜಾಬ್ ಸರ್ಕಾರ ಕರ್ನಾಟಕಕ್ಕೆ ಅಕ್ಕಿ ಸರಬರಾಜು ಮಾಡಲು ಸಿದ್ದವಿದೆ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಪಂಜಾಬ್ ನಿಂದ ಅಕ್ಕಿ ಖರೀದಿ ಬಗ್ಗೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಚರ್ಚಿಸಿದ್ದಾರೆ. ರಾಜ್ಯ ತಿಳಿಸುವ ದರಕ್ಕೆ ಅಕ್ಕಿ ನೀಡಲು ಪಂಜಾಬ್ ಸರ್ಕಾರದೊಂದಿಗೆ ಮತ್ತೊಮ್ಮೆ ಚರ್ಚಿಸಲಾಗುವುದು ಎಂದರು.
ಜುಲೈ 1 ರಿಂದ ರಾಜ್ಯದ ಜನರಿಗೆ ಅಕ್ಕಿಯನ್ನು ನೀಡಲು ಸರ್ಕಾರ ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದೆ. ಕೇಂದ್ರ ಸರ್ಕಾರದಲ್ಲಿ ಅಕ್ಕಿಯ ದಾಸ್ತಾನು ಲಭ್ಯವಿದ್ದು, ಅವರು ರಾಜ್ಯಕ್ಕೆ ಅಕ್ಕಿ ನೀಡಲು ಮನಸ್ಸು ಮಾಡಬೇಕಿದೆ. ಎಂಎಸ್‌ಪಿ ಮೂಲಕ ಅಕ್ಕಿ ಖರೀದಿಸಬೇಕಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243