ದಿನದ ಸುದ್ದಿ
ರಾಜ್ಯದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡಲು ಸೂಕ್ತ ಕ್ರಮ : ಸಿಎಂ ಬೊಮ್ಮಾಯಿ
ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಮುನ್ನೆಚ್ಚರಿಕೆಯ ಕ್ರಮವಾಗಿ ಉನ್ನತ ಅಧಿಕಾರಿಗಳ ಸಭೆ ನಡೆಸಿ, ಸೂಕ್ತ ಕ್ರಮಕ್ಕೆ ಆದೇಶ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಪರಿಸ್ಥಿತಿ ಶಾಂತವಾಗಿದೆ, ಆದರೂ ಜಾಗೃತರಾಗಿರಬೇಕೆಂದು ಸೂಚನೆ ನೀಡಲಾಗಿದೆ. ಪ್ರತಿಯೊಂದು ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಪರಿಸ್ಥಿತಿಯನ್ನು ಸೂಕ್ತವಾಗಿ ನಿಭಾಯಿಸಲು ಸ್ಥಳೀಯ ಪೊಲೀಸ್ ಅಧಿಕಾರಿಗಳಿಗೆ ತಾಕೀತು ಮಾಡಲಾಗಿದ್ದು, ಎಲ್ಲ ಸಮುದಾಯಗಳ ನಾಯಕರು ಸೌಹಾರ್ದತೆ ಕಾಪಾಡಬೇಕೆಂದು ಮನವಿ ಮಾಡಲಾಗಿದೆ ಎಂದರು.
ರಾಜ್ಯದಲ್ಲಿ ಆಸಿಡ್ ದಾಳಿಗಳನ್ನು ನಿಗ್ರಹಿಸಲು ಕಠಿಣ ಕಾನೂನು ರೂಪಿಸಲು ಕಾನೂನು ಸಚಿವರಿಗೆ ತಿಳಿಸಲಾಗಿದೆ. ಇಂತಹ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳಲಾಗುವುದು ಎಂದು ಅವರು ಭರವಸೆ ನೀಡಿದರು. ವಿಧಾನ ಪರಿಷತ್ ನಾಲ್ಕು ಕ್ಷೇತ್ರಗಳ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಮುಖ್ಯಮಂತ್ರಿ ವಿಶ್ವಾಸ ವ್ಯಕ್ತಪಡಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243