ನೆಲದನಿ
ವಿಶ್ವದಾಖಲೆಯ ಸಾಧಕ : ವೀರನಗೌಡ ಪಾಟೀಲ್ ಅವರ ಸಾಧನೆಯ ಹಾದಿ
ಸಾಧನೆ ಮತ್ತು ಸಾಧಕನಿಗೆ ಛಲವೊಂದಿದ್ದರೆ ಜಗತ್ತನ್ನೆ ಗೆಲ್ಲುವ ಶಕ್ತಿ ಲಭಿಸುತ್ತದೆ ಎಂಬ ಮಾತೊಂದಿದೆ. ಹಾಗಾಗಿ ಪ್ರತಿಯೊಂದು ಸಾಧನ ವಿದ್ಯೆಯು ಕೂಡ ಸಾಧಕನ ಸೊತ್ತೆ ಹೊರತು ಸೋಮಾರಿಯ ಸೊತ್ತಲ. ಆದ್ದರಿಂದ ಸಾಧನೆಯೆಂಬುದು ರಕ್ತಗತವಾಗಿಯೋ, ವಂಶ ಪಾರಂಪರ್ಯವಾಗಿಯೋ ಇಲ್ಲವೆ ಅದೃಷ್ಟದಿಂದಾಗಿಯೋ ಲಭಿಸುವಂತದ್ದಲ್ಲ. ಇಲ್ಲಿ ಸಾಧಿಸುವಂತಹ ಛಲವೇ ಪ್ರಮುಖ ಅಸ್ತ್ರವಾಗಿ ಕಾರ್ಯನಿರ್ವಹಿಸುತ್ತದೆ. ಈ ಸಾಧನೆಗೆ ಅಪಾರವಾದ ಪಾಂಡಿತ್ಯವಾಗಲಿ, ವಿದ್ವತ್ತಾಗಲಿ ಮುಖ್ಯವಂತೂ ಅಲ್ಲವೇ ಅಲ್ಲ ಎನ್ನುವುದಕ್ಕೆ ಸ್ಪಷ್ಟ ನಿದರ್ಶನವಾಗಿ ಹಲವಾರು ವಿಶ್ವದಾಖಲೆ ಪುರಸ್ಕಾರಗಳನ್ನು ತನ್ನ ಮುಡಿಗೇರಿಸಿಕೊಂಡ ಅಪ್ಪಟ ಗ್ರಾಮೀಣ ಪ್ರತಿಭೆಯಾಗಿರುವ ವೀರನಗೌಡ ಪಾಟೀಲ್ ಅವರು ಎದುರಾಗುತ್ತಾರೆ. ತನ್ನ ತಲೆಗೆ ನಾಟದ ಶಿಕ್ಷಣದಿಂದ ಹೊರ ಬಂದರೂ ಸಹ ಸಾಧನೆಯ ಹಾದಿಯೆಡೆಗೆ ತುಡಿದು ‘ಸಾಮ’ ಎಂಬ ಕಾವ್ಯನಾಮದ ಮೂಲಕವೇ ಗುರುತಿಸಿಕೊಂಡಿರುವ ಶ್ರೀಯುತ ವೀರನಗೌಡ ಪಾಟೀಲ್ ಅವರ ಸಾಧನೆಯ ಹಾದಿಯನ್ನು ಅನಾವರಣಗೊಳಿಸುವುದು ಪ್ರಸ್ತುತ ಲೇಖನದ ಆಶಯವಾಗಿದೆ.
ಶ್ರೀಯುತ ವೀರನಗೌಡ ಪಾಟೀಲರು ಆಗಸ್ಟ್, 10, 1988 ರಂದು ಹಾವೇರಿ ತಾಲ್ಲೂಕಿನ ಸೋಮನಕಟ್ಟಿ ಎಂಬ ಗ್ರಾಮದಲ್ಲಿ ಶ್ರೀಮತಿ ಸಾವಿತ್ರವ್ವ ಶ್ರೀ ಮಂಜೆನಗೌಡ ದಂಪತಿಗಳ ಪುತ್ರನಾಗಿ ಜನಿಸಿದರು. ಬಾಲ್ಯದ ದಿನಮಾನಗಳಿಂದ ಬಡತನದ ಬದುಕಿನೊಳಗೆ ಬೆಳೆದು ಬಂದ ಶ್ರೀಯುತ ವೀರನಗೌಡ ಅವರಿಗೆ ಶಾಲಾ ಶಿಕ್ಷಣ ಅನ್ನುವಂತದ್ದು ನುಂಗಲಾರದ ತುತ್ತಾಗಿತ್ತು. ಪ್ರಥಮ ಪಿಯುಸಿ ಶಿಕ್ಷಣಕ್ಕೆ ಪಾದಾರ್ಪಣೆ ಮಾಡುವ ವೇಳೆಗಾಗಲೆ ಇಂಗ್ಲೀಷ್ ಶಿಕ್ಷಣವು ಕಬ್ಬಿಣದ ಕಡಲೆಯಾಗಿ ಪರಿಣಮಿಸಿತು. ಇದರಿಂದಾಗಿ ಇಲ್ಲಿಗೆ ತಮ್ಮ ಶಿಕ್ಷಣಕ್ಕೆ ವಿದಾಯವನ್ನು ಹೇಳಿದ ಇವರು ಜೀವನ ಮಾರ್ಗಕ್ಕಾಗಿ ಟೈಲರಿಂಗ್ ವೃತ್ತಿಯೆಡೆಗೆ ತಮ್ಮ ಚಿತ್ತವನ್ನು ಕೇಂದ್ರಿಕರಿಸಿ, ಈ ವೃತ್ತಿಯನ್ನು ತಮ್ಮ ಬದುಕಿನ ಮಾರ್ಗವಾಗಿ ಮುಂದುವರೆಸಿದರು. ಆದರೆ ಸದಾ ಕ್ರಿಯಾಶೀಲರಾಗಿದ್ದ ಶ್ರೀಯುತ ವೀರನಗೌಡ ಅವರು ತಾನು ಏನಾದರು ಸಾಧನೆ ಮಾಡಬೇಕೆಂದು ಒಂದಿಲ್ಲೊಂದು ಕಾರ್ಯಗಳಲ್ಲಿ ಸದಾ ಕಾರ್ಯಪ್ರವೃತ್ತರಾಗುತ್ತಿದ್ದರು. ಇದರ ಭಾಗವಾಗಿ ತನ್ನ ವೃತ್ತಿ ಬದುಕಿನಲ್ಲಿ ಲಭ್ಯವಾಗುತ್ತಿದ್ದ ದಾರದ ಕೊಳವೆಗಳನ್ನು ಸಂಗ್ರಹಿಸಿ ಅವುಗಳಿಂದ ವಿವಿಧ ತೆರನಾದ ಆಕರ್ಷಕ ಕಲಾಕೃತಿಗಳನ್ನು ತಯಾರಿಸಲು ಮುಂದಾದರು. ಹೀಗೆ ಆರಂಭವಾದ ಈ ವೃತ್ತಿಯೊಂದಿಗಿನ ಪ್ರವೃತ್ತಿಯು ದಿನದಿಂದ ದಿನಕ್ಕೆ ಅಧಿಕವಾಗುತ್ತ ಸಾಗಿತು. ನಿರುಪಯುಕ್ತವಾಗಿರುವ ಈ ದಾರದ ಕೊಳವೆಯ ಜೊತೆ ಜೊತೆಗೆ ಇನ್ನಿತರ ನಿರುಪಯುಕ್ತ ವಸ್ತುಗಳನ್ನು ಸಂಗ್ರಹಿಸುವ ಮೂಲಕ ವಿವಿಧ ಕಲಾಕೃತಿಗಳನ್ನು ತಯಾರಿಸಲು ಮುಂದಾಗಿ ಮಂಟಪ, ಖುರ್ಚಿ, ಮೇಜು ಹಾಗೆಯೇ ಇತರ ವಿವಿಧ ಕಲಾಕೃತಿಗಳ ತಯಾರಿಕೆಯಲ್ಲಿ ಸಿದ್ಧಿಯನ್ನು ಸಾಧಿಸಿದರು.
ಹೀಗೆ ನಿರಂತರವಾದ ಸಾಧನೆಯಲ್ಲಿ ನಿರತರಾದ ಇವರ ಕಲಾ ಕುಸುರಿ ವಸ್ತುಗಳು ಸಾಕಷ್ಟು ಕಡೆಗಳಲ್ಲಿ ಪ್ರದರ್ಶನವಾಗಿ ಕಲಾಸಕ್ತರನ್ನು ಆಕರ್ಷಿಸಿದವು. ಇವರ ಈ ಸಾಧನೆಯು ಹಲವಾರು ಪತ್ರಿಕೆಗಳಲ್ಲಿ ಪ್ರಕಟವಾಯಿತು. ಇವರ ಸಹೋದ್ಯೋಗಿಗಳಾದ ಸಂತೋಷ್ ಎಂಬುವವರು ತನ್ನ ಸ್ನೇಹಿತನ ಈ ಸಾಧನೆಯನ್ನು ಕಂಡು ಅವರ ಹತ್ತಿರದ ಸಂಬಂಧಿಕರಾದ ಅಂಬಿಕಾ ಎಂಬ ಶಿಕ್ಷಣ ತಜ್ಞರನ್ನು ಪರಿಚಯ ಮಾಡಿಸುವ ಮೂಲಕ ಇವರ ಸಾಧನೆಯ ಪ್ರಚಾರಕ್ಕೆ ಸಹಕರಿಸಿದರು. ಅಂಬಿಕಾ ಎಂಬುವವರು ಇವರ ಕರಕುಶಲತೆಯ ವಿಶೇಷತೆಯನ್ನು ಗಮನಿಸಿ ‘ಗ್ರೀನ್ ಇಂಡಿಯಾ ಇಂಟರ್ ನ್ಯಾಷನಲ್ ಬುಕ್ ಆಫ್ ರೆಕಾರ್ಡ್’ ಪಟ್ಟಿಯೊಳಗೆ ಇವರ ಸಾಧನೆಯನ್ನು ಪರಿಚಯಿಸಿದರು. ಇವರ ಈ ಸಾಧನೆಯನ್ನು ಗಮನಸಿ ಇವರನ್ನು ವಿಶ್ವದಾಖಲೆ ಪಟ್ಟಿಗೆ ಆಯ್ಕೆ ಮಾಡಲಾಯಿತು. ಆ ಮೂಲಕವಾಗಿ ವಿಶ್ವದಾಖಲೆ ಪಟ್ಟಿಯೊಳಗೆ ತಮ್ಮ ಅಸ್ತಿತ್ವವನ್ನು ಗುರುತಿಸಿಕೊಂಡರು.
ಶ್ರೀಯುತರು ಕಲಾಕೃತಿ ರಚನೆಯಲ್ಲಿ ವಿಶ್ವದಾಖಲೆಯನ್ನು ತನ್ನ ಮುಡಿಗೇರಿಸಿಕೊಂಡು ಸಾಧನೆಯ ಶಿಖರವೇರಿದೆ ಎಂದು ತೃಪ್ತಿಪಟ್ಟುಕೊಳ್ಳದೆ ಸಾಹಿತ್ಯ ಕ್ಷೇತ್ರದಲ್ಲಿಯೂ ಸಾಧನೆ ಮಾಡುವ ಹಂಬಲವೊತ್ತು ಮುನ್ನೆಡೆದರು. ಅದಕ್ಕಾಗಿ ಮೊದಲು ಕಾವ್ಯ ರಚನೆಯಲ್ಲಿ ತಮ್ಮನ್ನು ತೊಡಗಿಸಿಕೊಂಡು ಹಲವಾರು ಹಿರಿಯ ಮತ್ತು ಸಮಕಾಲೀನ ಕವಿಗಳ ಅಧ್ಯಯನಕ್ಕೆ ಮುಂದಾದರು. ಆ ಮೂಲಕವಾಗಿ ಹಲವಾರು ಕವಿತೆಗಳನ್ನು ನಾಡಿನ ವಿವಿಧ ಪತ್ರಿಕೆಗಳಲ್ಲಿ ಪ್ರಕಟಿಸಿದರು. ನಂತರದಲ್ಲಿ ವಿಭಿನ್ನವಾದ ಕ್ರಿಯಾಶೀಲತೆಯನ್ನು ಪ್ರದರ್ಶಿಸುವ ಆಶಯವೊತ್ತು ಏನನ್ನಾದರು ಸಾಧಿಸಬೇಕು ಹಂಬಲದಿಂದ ‘ಹ’ ಅಕ್ಷರವನ್ನು ಆರಂಭವಾಗಿಟ್ಟುಕೊಂಡು ಹ ಕಾರದಿಂದಲೆ ಕಾದಂಬರಿಯೊಂದನ್ನು ಬರೆಯಲು ಮುಂದಾದರು. ಹೀಗೆ ಆರಂಭವಾದ ಈ ಪ್ರಯತ್ನದ ಫಲವಾಗಿ ಸುಮಾರು ಮೂರು ನೂರಕ್ಕೂ ಅಧಿಕ ಪುಟಗಳ ಕಾದಂಬರಿಯನ್ನು ಕನ್ನಡ ಸಾರಸ್ವತ ಲೋಕಕ್ಕೆ ನೀಡಿದ್ದಾರೆ. ಹೀಗೆ ತನ್ನ ನಿರಂತರ ಶ್ರಮ ಹಾಗೂ ಕ್ರಿಯಾಶೀಲತೆಯ ಮೂಲಕ ರಚಿಸಿದ ಕೃತಿಯನ್ನು ಮುದ್ರಿಸಲು ಹಣಕಾಸಿನ ತೊಂದರೆಯಿಂದಾಗಿ ಮತ್ತೊಮ್ಮೆ ತನ್ನ ಕೈ ಬರಹದ ಮೂಲಕವೇ ಸ್ಪಷ್ಟವಾಗಿ ರಚಿಸಿ, ವಿಶ್ವದಾಖಲೆಯ ಸ್ಪರ್ಧೆಗೆ ಕಳುಹಿಸಿಕೊಟ್ಟಿರುತ್ತಾರೆ. ಇದನ್ನು ಗಮನಿಸಿ ಈ ಕೃತಿಯೂ ಕೂಡ 2015ರಲ್ಲಿ ‘ಗೋಲ್ಡ್‍ಸ್ಟಾರ್ ಅಚೀವರ್ ಬುಕ್ ಆಫ್ ರೆಕಾಡ್ರ್ಸ್’ ವಿಶ್ವದಾಖಲೆ ಪುರಸ್ಕಾರಕ್ಕೆ ಆಯ್ಕೆಯಾಯಿತು.
ಶ್ರೀಯುತ ವೀರನಗೌಡ ಪಾಟೀಲರು ಕಲೆ ಮತ್ತು ಸಾಹಿತ್ಯ ಸೇವೆಯ ಜೊತೆ ಜೊತೆಯಲ್ಲಿ ಪರಿಸರ ಉಳಿಸಿ, ಬೆಳೆಸುವ ಕಾಳಜಿಯೊತ್ತು ಹಲವಾರು ಕಾರ್ಯಕ್ರಮಗಳನ್ನು ರೂಪಿಸಿಕೊಂಡು ಬಂದಿದ್ದಾರೆ. ಆ ಮೂಲಕ ತನ್ನ ಸುತ್ತಮುತ್ತಲಿನ ಜನತೆಗೆ ಪರಿಸರ ಜಾಗೃತಿ ಮೂಡಿಸುವಲ್ಲಿ ಅವಿರತವಾದ ಶ್ರಮವನ್ನು ಸಲ್ಲಿಸುತ್ತಿದ್ದಾರೆ. ಇದರ ಜೊತೆಯಲ್ಲಿ ತಾನು ಕಲಿತ ಕರಕುಶಲ ಕಲೆಯನ್ನು ಗ್ರಾಮೀಣ ಶಾಲಾ ಮಕ್ಕಳಿಗೆ ತರಬೇತಿ ನೀಡುವಂತಹ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಈ ನಿಟ್ಟಿನಲ್ಲಿ ಸಾಗಿದ ಇವರ ಕಲಾ ಸೇವೆಯು ನಿರಂತರವಾಗಿ ಸಮಾಜ ಸೇವೆಯಲ್ಲಿ ತಮ್ಮನ್ನು ಗುರುತಿಸಿಕೊಂಡಿದ್ದಾರೆ. ಹೀಗೆ ಒಂದಿಲ್ಲೊಂದು ಕಾರ್ಯಗಳಲ್ಲಿ ಸದಾ ಕ್ರಿಯಾಶೀಲರಾಗಿರುವ ಶಿವನಗೌಡರು ಸರಳತೆ ಮತ್ತು ಸಜ್ಜನಿಕೆಯ ಸ್ವಭಾವದವರಾಗಿದ್ದಾರೆ. ಇವರ ಈ ಸಾಧನೆಗಳನ್ನು ನಾಡಿನ ವಿವಿಧ ಪತ್ರಿಕೆ ಹಾಗೂ ಟಿವಿ ಮಾಧ್ಯಮಗಳು ಪರಿಚಯಿಸಿವೆ. ಹಾಗೆಯೇ ಹಲವಾರು ಗೌರವ ಮತ್ತು ಪುರಸ್ಕಾರಗಳು ಇವರ ಮುಡಿಗೇರಿವೆ. ಇವುಗಳಲ್ಲಿ ಪ್ರಮುಖವಾದವುಗಳೆಂದರೆ, ರಾಷ್ಟ್ರೀಯ ಚಿಂತನ ಆರ್ಟಿಸ್ಟ್ ಪ್ರಶಸ್ತಿ, ರಾಷ್ಟ್ರೀಯ ಚಿಂತನ ವಿಜ್ಞಾನ ಪ್ರಶಸ್ತಿ, ಗಮನ ಶ್ರೀನಂದಿ ಪ್ರಶಸ್ತಿ, ಜವಹರಲಾಲ ನೆಹರು ಸದ್ಬಾವನಾ ಪ್ರಶಸ್ತಿ, ಕರುನಾಡ ವಿಕ್ರಮ ಶ್ರೀ ಪ್ರಶಸ್ತಿ, ರಾಷ್ಟ್ರೀಯ ವಿಕಾಸ ರತ್ನ ಪ್ರಶಸ್ತಿ, ಕಾವ್ಯಾಂಜಲಿ ಪ್ರಶಸ್ತಿ, ಗ್ರೀನ್ ಇಂಡಿಯಾ ಇಂಟರ್ ನ್ಯಾಷನಲ್ ಬುಕ್ ಆಫ್ ರೆಕಾರ್ಡ್, ಗೋಲ್ಡ್‍ಸ್ಟಾರ್ ಅಚೀವರ್ ಬುಕ್ ಆಫ್ ರೆಕಾರ್ಡ್, ಎಕ್ಸಲೆಂಟ್ ಬುಕ್ ಆಫ್ ರೆಕಾರ್ಡ್, ಕನ್ನಡ ಸಾಹಿತ್ಯ ರತ್ನ ಶಿಖಿಯಂತಹ ಪ್ರಶಸ್ತಿಗಳ ಜೊತೆಗೆ ‘ಕನ್ನಡದ ಕಂದ’ ಹಾಗೂ ‘ಹ ಕಾರದ ಹಮ್ಮೀರ’ ಎಂಬ ಬಿರುದುಗಳು ಸಹ ಶ್ರೀಯುತರಿಗೆ ಪ್ರಾಪ್ತಿಯಾಗಿವೆ.
ಶ್ರೀಯುತ ವೀರನಗೌಡ ಪಾಟೀಲರು ಬಹುಮುಖಿ ಪ್ರತಿಭೆಯ ವ್ಯಕ್ತಿತ್ವ ಉಳ್ಳವರು. ತುಂಬಿದಕೊಡ ತುಳುಕುವುದಿಲ್ಲವೆಂಬ ಗಾದೆ ಮಾತನ್ನು ಇಂತಹ ವಿಶಿಷ್ಟ ಸಾಧಕರನ್ನು ನೋಡಿಯೇ ನಮ್ಮ ಜಾನಪದರು ಸೃಷ್ಟಿಸಿರುವಂತಿದೆ. ಶ್ರೀಯುತರು ಶಾಲೆಯ ಮೂಲಕ ಕಲಿತು ಪಡೆದ ಶಿಕ್ಷಣ ಅಲ್ಪವಾದರೂ ಅರಿವಿನ ಮೂಲಕ ಪಡೆದ ವಿದ್ಯೆ ಅಪಾರವಾದುದಾಗಿದೆ. ಇವರು ಹಲವಾರು ಸಾಹಿತ್ಯ ಮತ್ತು ಸಾಂಸ್ಕøತಿಕ ಹುದ್ದೆಗಳನ್ನು ಅಲಂಕರಿಸುವುದರ ಜೊತೆಗೆ ನಾಡಿನ ವಿವಿಧ ಪತ್ರಿಕೆಗಳಲ್ಲಿ ಸಂಪಾದಕರಾಗಿ, ಅಂಕಣಕಾರರಾಗಿ, ಪುಟ ವಿನ್ಯಾಸಕರಾಗಿ ವಿವಿಧ ಹುದ್ದೆಗಳನ್ನು ನಿಭಾಯಿಸುತ್ತಿದ್ದಾರೆ. ಕವಿಗಳಾಗಿ ಹಲವಾರು ಕಾವ್ಯಗಳನ್ನು ಪ್ರಕಟಿಸಿದ್ದಾರೆ. ಇದರ ಜೊತೆಗೆ ಹಲವಾರು ಭಾವಗೀತೆಗಳನ್ನು ರಚಿಸುವ ಮೂಲಕ ಕನ್ನಡ ಸಾರಸ್ವತ ಲೋಕಕ್ಕೆ ಅಮೋಘವಾದ ಕಾಣಿಕೆಯನ್ನು ನೀಡಿದ್ದಾರೆ. ಈ ಎಲ್ಲದರಾಚೆ ತಮ್ಮ ಗ್ರಾಮದ ಹಲವು ಸಾಧನೆಗಳ ಮೊದಲಿಗರಾಗಿ ಸಾಧನೆ ಮೆರೆದಿದ್ದಾರೆ.
ಶ್ರೀಯುತ ವೀರನಗೌಡ ಪಾಟೀಲ್ ಅವರ ಸಾಧನೆಯು ಅನುಪಮವಾಗಿದ್ದು, ಕ್ರಿಯಾತ್ಮಕ ನೆಲೆಯಿಂದ ಕೂಡಿದೆ. ಕಿರಿಯ ವಯಸ್ಸಿನಲ್ಲಿಯೇ ಮಹತ್ತರವಾದ ಸಾಧನೆಗೆ ಮುಂದಾಗಿ ಅದರಲ್ಲಿ ಯಶಸ್ಸನ್ನು ಕಂಡುಕೊಂಡಿದ್ದಾರೆ. ಇವರ ಈ ಸಾಧನೆ, ಸಾಮಾಜಿಕ ಸೇವೆ ಮತ್ತು ಪರಿಸರ ಕಾಳಜಿಯಿಂದಾಗಿ ಮತ್ತಷ್ಟು ಸಾಧನೆಯನ್ನು ಕೈಗೊಳ್ಳುವಂತಾಗಲಿ ಎಂಬುದು ನಮ್ಮ ಹಾರೈಕೆ.

ಅಂತರಂಗ
ಡಾ. ಆತ್ಮಾರಾಮನ ಆತ್ಮನಿವೇದನೆ | ಮೆಟ್ಟಿಲಿನವನು
~ ಯೋಗೇಶ್ ಮಾಸ್ಟರ್
ಮೆಟ್ಟಿಲುಗಳ ಮೇಲೆ ನಿಂತು ದಿಟ್ಟಿಸುತ್ತಿರುವವನ ನೋಡುಗರು ಏನೆಂದು ತಿಳಿದಾರು? ಹತ್ತುತ್ತಿರುವನೆಂದೋ, ಇಳಿಯುತ್ತಿರುವನೆಂದೋ? ಯಾರೇನಾದರೂ ಅಂದುಕೊಳ್ಳಲಿ ಹೊರಗೆ ಹತ್ತುತ್ತಿರುವವನು ಇಳಿಯುತ್ತಿರಬಹುದು. ಇಳಿಯುತ್ತಿರುವವನು ಹತ್ತುತ್ತಿರಬಹುದು.
ಈಗ ಯಾರೂ ನೋಡುತ್ತಿಲ್ಲ. ನಾನು ಹತ್ತುತ್ತಿರುವೆನೋ ಇಳಿಯುತ್ತಿರುವೆನೋ ಯಾರೂ ನೋಡುತ್ತಿಲ್ಲ. ಯಾರೊಬ್ಬರೂ ಇಲ್ಲದಿರುವಾಗಲೂ ನಾನು ನನಗೆ ಪ್ರಾಮಾಣಿಕವಾಗಿ ಇರದಿದ್ದರೆ? ‘ಆತ್ಮಾರಾಮ್, ಈಗೇನು ನೀನು ಏರುತ್ತೀಯೋ, ಇಳಿಯುತ್ತೀಯೋ?’ ಬೇರೊಬ್ಬರು ಕೇಳುವ ಪ್ರಶ್ನೆಗಳಿಗೆ ಉತ್ತರಿಸಿಬಿಡಬಹುದು. ನಾನೇ ಹಾಕಿಕೊಳ್ಳುವ ಪ್ರಶ್ನೆಗೆ ನಾನೇ ಉತ್ತರಿಸುವ ಧೈರ್ಯ ಅಷ್ಟು ಸುಲಭದಲ್ಲಿ ಬರುವುದಿಲ್ಲ.
ನೂರಾರು ಆಪ್ತ ಸಮಾಲೋಚನೆಗಳಲ್ಲಿ ಸಾವಿರಾರು ಪ್ರೊಜೆಕ್ಟಿವ್ ಪ್ರಶ್ನೆಗಳನ್ನು ಕೇಳಿದ್ದೇನೆ. ನನಗೆ ನಾನೇ ಪ್ರೊಜೆಕ್ಟ್ ಮಾಡುವ ಪ್ರಶ್ನೆಯನ್ನು ನಾನು ಹಾಕಿಕೊಳ್ಳಲು ಇದುವರೆಗೂ ಆಗಿಲ್ಲ.
ಇವತ್ತು ಹಾಕಿಕೊಂಡೆ. ಅದ್ಯಾಕೋ ಮೆಟ್ಟಿಲುಗಳು ನನ್ನ ಪ್ರಶ್ನಿಸಿದವು. ಹೇ ಆತ್ಮಾರಾಮ್, ಈಗೇನು? ನೀನು ಏರುತ್ತೀಯೋ? ಇಳಿಯುತ್ತೀಯೋ?’ ಏರಿದ್ದೇನೆಂದುಕೊAಡು ಇಳಿದಿರುವ ನಾನು ಹೇಗೆ ಉತ್ತರಿಸಲಿ? ಮೆಲ್ಲನೆ ಕುಳಿತುಬಿಟ್ಟೆ.
ಹೌದು, ಈ ಮೆಟ್ಟಿಲುಗಳು ಬರೀ ಏರಲಲ್ಲ, ಇಳಿಯಲೂ ಅಲ್ಲ. ಕುಳಿತುಕೊಳ್ಳಲೂ ಹೌದು.
ಒಳಗಿರುವ ಮಾತುಗಳು ಹೊರಗೆಡವಲೂ ಅಲ್ಲ, ಒಳಗೆ ನುಂಗಿಕೊಳ್ಳಲೂ ಅಲ್ಲ. ಆದರೆ ಅವು ಬಹುಕಾಲದಿಂದ ಕಾಯುತ್ತಲೇ ಇವೆ. ಕಾದು ಕಾದು ಬಿಸಿಯೇರಿದೆ. ಈಗ ಹೊರಗೆಡಬೇಕು ಅಥವಾ ನುಂಗಬೇಕು. ಹಾಗೆಯೇ ತಣ್ಣಗಾಗುವ ಬಗೆಯೇನಾದರೂ ಇದೆಯಾ?
ನೋಡುಗರ ಕಣ್ಣಲ್ಲಿ ನಾನೊಂದು ಪರಮ ಶಾಂತಿ. ಆದರೆ ಅದು ನನ್ನೊಳಗೆ ಬರೀ ಭ್ರಾಂತಿ. ಒಳಗೆ ಪದೇ ಪದೇ ಪ್ರತಿಧ್ವನಿಸುತ್ತಿರುವ ಸದ್ದುಗಳ ಸೊಲ್ಲಡಗಿಸಿ ಸುಮ್ಮನಿರಿಸಲು ಹೇಗಾದೀತು? ಆಪ್ತ ಸಮಾಲೋಚನೆಗೆ ಬಂದವರು ಇದನ್ನು ಹೇಳಿದರೆ, “ಪದೇ ಪದೇ ಆಲೋಚನೆಗಳು ಬರುತ್ತಿದ್ದರೆ ಅದನ್ನು ಚಿಂತಾಚಕ್ರ ಅಥವಾ ಡಿumiಟಿಚಿಣioಟಿ ಎನ್ನುತ್ತೇವೆ. ಅದರಿಂದ ನೀವು ಹೊರಗೆ ಬರಬೇಕು” ಎಂದು ಎಂತದ್ದೋ ಒಂದಷ್ಟು ಸಲಹೆ ಸೂಚನೆಗಳನ್ನು ಕೊಟ್ಟು ಕಳುಹಿಸುತ್ತಿದ್ದೆ. ಆದರೆ ನನಗೆ ನಾನು ಎಂತದ್ದೋ ಒಂದಷ್ಟು ಸಲಹೆ ಸೂಚನೆಗಳನ್ನು ಕೊಟ್ಟುಕೊಳ್ಳಲು ಆಗದು.
ಸದ್ದಿಲ್ಲದ ಹಗಲಲ್ಲಿ, ಸದ್ದಡಗಿದಾಗ ರಾತ್ರಿಯಲ್ಲಿ ಹಳೆಯ ಮಾತುಕತೆಗಳು, ತಪುö್ಪಗಳು, ಬೇಸರಗಳು, ಪಶ್ಚಾತ್ತಾಪಗಳು ಮತ್ತು ವೈಫಲ್ಯಗಳು ಹಿಂದೆ ಹಿಂದೆಯೇ ಕಡಲ ತಡಿಗೆ ಬಂದಪ್ಪಳಿಸುವ ತಡೆಯಲಾಗದ ಅಲೆಗಳಾಗಿರುತ್ತವೆ. ಬೆಳಗಾದಾಗ ಗತ್ಯಂತರವಿಲ್ಲದೇ ಮಾಡುವ ಗದ್ದಲದಲ್ಲಿ ರಾತ್ರಿಗಾಗಿ ಕಾಯುತ್ತಾ ಒಳಗವಿತಿರುವ ಹೆಗ್ಗಣಗಳಂತೆ, ಜಿರಳೆಗಳಂತೆ ಅದೆಲ್ಲೋ ಬಿದ್ದಿರುತ್ತವೆ. ರಾತ್ರಿಯಾದರೆ ಸಾಕು ಮೆದುಳೆಂಬ ಒಡಕಲು ಪ್ರೊಜೆಕ್ಟರ್ ತನ್ನ ಮಾಸಲು ಸಿನಿಮಾವನ್ನು ತಂತಾನೆ ತೋರಿಸಲಾರಂಭಿಸುತ್ತವೆ.
ಅವರಿಗೆ ಇವರಿಗೆ ನಾನು ಹೇಳುವುದು ಅದೆಷ್ಟು ಕಪಟತನದ್ದು!
‘ಇದು trap of overthinking. ನೀವು ಹೊರಗೆ ಬರಬೇಕು.’
ನನಗೇ ಅವನ್ನು ನೋಡಿಕೊಳ್ಳಲು ಆಗಿಲ್ಲ. ನೋಡಿಕೊಳ್ಳಲು ಆಗಿಲ್ಲ ಎನ್ನುವುದಕ್ಕಿಂತ ನೋಡಿಕೊಳ್ಳಲು ಭಯ. ನನಗೆ ನನ್ನ ಮೇಲೆಯೇ ಜಿಗುಪ್ಸೆ ಬಂದುಬಿಟ್ಟೀತೆAಬ ಭಯ. ಆದರೆ ನೋಡಿಕೊಂಡರೆ ಬಾಧೆ ನಿವಾರಣೆಯಾಗಬಹುದು. ಚಿಂತಾಚಕ್ರ ತಿರುಗುತ್ತಿದ್ದಂತೆ, ಬಹುಕಾಲ ತಿರುಗುತ್ತಲೇ ಇದ್ದಂತೆ ಸವೆಯುವುದು. ಆ ಸವಕಳಿ ಚಿಂತಾಚಕ್ರವನ್ನು ಇಲ್ಲವಾಗಿಸದು. ಆದರೆ ಅದು ಸುತ್ತಲು ಮಧ್ಯದ ಕೀಲಾಗಿರುವ ನನ್ನ ಬಳಲಿಸುವುದು.
ಆ ಬಳಲಿಕೆಯೇ ನನ್ನ ವಯಸ್ಸಿಗಿಂತ ಹೆಚ್ಚು ಆಯಸ್ಸಾದಂತೆ ಕಾಣಿಸುವುದು. ಇರುವುದಕ್ಕಿಂತ ದೇಹ ಭಾರವಾಗಿರುವುದು.
ಹೌದಲ್ಲಾ, ಏರುತ್ತಲೋ, ಇಳಿಯುತ್ತಲೋ ಹೆಣಗಾಡುವ ಬದಲು ಕುಳಿತಾದ ಅಂದೆತದ್ದೋ ಪ್ರಶಾಂತತೆ ಒದಗಿದೆ ಇಂದು! ನನಗೆ ನಾನೇ ಹಳೆಯ ಸ್ನೇಹಿತನಾಗಿ ಕುಳಿತುಕೊಂಡು ನನ್ನದೇ ಮಾತುಗಳಿಗೆ ನಾನೇ ಕಿವಿಯಾಗುವ ಸರತಿ ಇಂದು ಒದಗಿತೇ?
ನನಗೆ ನಾನೇ ಹೇಳಿಕೊಳ್ಳುವುದು ಪರಕೀಯವೆನ್ನಿಸಿದರೂ ಒಂದಿಷ್ಟು ಉಸಿರಾಡಲು ಸರಾಗವೆನಿಸಿದೆ. ಕೈ ಮುಷ್ಟಿಗಟ್ಟಿದರೂ ಒಳಗೇ ಸಡಿಲವಾಯಿತು. ಮಡಿಸಿದ ಮೊಣಕೈ ತೊಡೆಯ ಮೇಲೆ ಒತ್ತುವುದನ್ನು ನಿಲ್ಲಿಸಿ ಹಗುರವಾಗಿ ಹತ್ತಿಯಂತೆ ಊರಿತು. ಮಧ್ಯಾಹ್ನದಲ್ಲೂ ತಂಗಾಳಿಯು ಮುಖಕ್ಕೆ ಮುತ್ತಿಡತೊಡಗಿತು.
ನಾಳೆ ಈ ಚಿಂತಾಚಕ್ರ ಮತ್ತೆ ತಿರುಗಣಿಯಾಗಬಹುದೇನೋ. ಆದರೆ ಚಿಂತೆಗಳ ನಡುನಡುವೆ ಒಂದಿಷ್ಟು ಉಸಿರುತೆಗೆದುಕೊಳ್ಳಲು ಸಾಧ್ಯವಾಗಿದ್ದು, ಏರುವುದನ್ನು, ಇಳಿಯುವುದನ್ನು ಬಿಟ್ಟು ಈ ಮೆಟ್ಟಿಲುಗಳ ಮೇಲೆ ಕೂತಿದ್ದಕ್ಕೆ.
‘ಹೌದು ಕಣೋ ಆತ್ಮಾ, ಹೌದು!’

ಅಂತರಂಗ
ದಿಮಾಗಿ ನಕ್ಸಲ್-ನಗರ ನಕ್ಸಲ್
~ರಹಮತ್ ತರೀಕೆರೆ, ಚಿಂತಕರು
ಕಾರ್ನಾಡರಲ್ಲಿ ನನಗೆ ಮೊದಲಿಂದಲೂ ವೈಯಕ್ತಿಕ ಸಂಪರ್ಕ ಇರಲಿಲ್ಲ. ಅನಂತಮೂರ್ತಿ ಅವರಂತೆ ಅವರು ಕಿರಿಯ ಲೇಖಕರ ಜತೆ ನಂಟಿರಿಸಿಕೊಂಡವರಲ್ಲ. ಯಾರಿಗಾದರೂ ಮುನ್ನುಡಿ ಬರೆದಿದ್ದೂ ನನಗೆ ತಿಳಿದಿಲ್ಲ. ತಾವಾಯಿತು ತಮ್ಮ ಬರೆಹ, ಸಿನಿಮಾ ಆಯಿತು ಎಂದಿದ್ದವರು. ಮಹಾರಾಷ್ಟ್ರದಲ್ಲಿ ಹುಟ್ಟಿ, ಜೀವಿತದ ಬಹುಕಾಲ ಕರ್ನಾಟಕದ ಹೊರಗಿದ್ದ ಅವರು, ಕರ್ನಾಟಕದ ಸಾರ್ವಜನಿಕ ಕಾರ್ಯಕ್ರಮಗಳಲ್ಲೂ ಹೆಚ್ಚು ಕಾಣಿಸಿದವರಲ್ಲ. ಸಮಕಾಲೀನರಾದ ತೇಜಸ್ವಿ ಲಂಕೇಶ್ ಅನಂತಮೂರ್ತಿ ಅವರಂತೆ ಪಬ್ಲಿಕ್ ಇಂಟಲೆಕ್ಚುವಲ್ ಕೆಲಸವನ್ನು ಮೈಮೇಲೆ ಹಾಕಿಕೊಂಡು, ಕರ್ನಾಟಕದ ಕಷ್ಟದ ದಿನಗಳಲ್ಲಿ ತಮ್ಮ ಮಾತು ಭಾಷಣ ಬರೆಹಗಳಿಂದ ಜನಾಭಿಪ್ರಾಯ ರೂಪಿಸಿದವರಲ್ಲ.
ಹೀಗಿದ್ದ ಕಾರ್ನಾಡರು ಬಾಳಿನ ಕೊನೆಯ ವರ್ಷಗಳಲ್ಲಿ ಆಶ್ಚರ್ಯಕರವಾಗಿ ಬದಲಾದರು; ಸಾರ್ವಜನಿಕ ಮಹತ್ವದ ಪ್ರಸಂಗಗಳಲ್ಲಿ ಮಾತಾಡಿದರು. ಹಠಬಿದ್ದಂತೆ ಬೀದಿಗಿಳಿದರು. ಈ ರೂಪಾಂತರಕ್ಕೆ ಕಾರಣ, ಪ್ರಭುತ್ವಗಳು ರಾಜಕೀಯ ಸೈದ್ದಾಂತಿಕ ಭಿನ್ನಮತಗಳನ್ನು ದಮನಿಸುವ ನಡೆಗಳಿರಬಹುದು; ಅನಂತಮೂರ್ತಿ ತೇಜಸ್ವಿ ಲಂಕೇಶ್ ತೀರಿಕೊಂಡ ಬಳಿಕ, ಉಂಟಾದ ರಿಕ್ತತೆ ಅವರನ್ನು ಈ ಹೊಸ ಪಾತ್ರ ನಿರ್ವಹಿಸುವಂತೆ ಆಹ್ವಾನಿಸಿರಬಹುದು. ಅವರು ತಮ್ಮ ಮಾತು, ಕೃತಿ, ಕ್ರಿಯೆಗಳಲ್ಲಿ ಭಾರತವನ್ನು ಆವರಿಸುತ್ತಿರುವ ಮತೀಯತೆ ಕುರಿತು ವ್ಯಗ್ರರಾಗಿದ್ದರು.
ಅವರು ಮಾಡಿದ ಸಾರ್ವಜನಿಕ ಪ್ರತಿರೋಧದ ಪ್ರಕರಣಗಳನ್ನು ಗಮನಿಸಬೇಕು. ಬಾಬರಿ ಮಸೀದಿಯ ಧ್ವಂಸವನ್ನು ವಿರೋಧಿಸಿದ್ದು; ನೈಪಾಲರ ಬಲಪಂಥೀಯವಾದ ಬೆಂಬಲಿಸುವ ನಿಲುವನ್ನು ಖಂಡಿಸಿದ್ದು; ಬಾಬಾಬುಡನಗಿರಿ ಚಳುವಳಿಯಲ್ಲಿ ಭಾಗವಹಿಸಿದ್ದು; ಟಿಪ್ಪು ನೆನಪಿನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು; ಟಿಪ್ಪು ಕುರಿತು ನಾಟಕ ಬರೆದಿದ್ದು; ಎಂ. ಎಫ್. ಹುಸೇನರ ಸೃಜನಶೀಲತೆ ಪರವಾಗಿ ನಿಂತಿದ್ದು; ಗೋರಕ್ಷಣೆ ಹೆಸರಲ್ಲಿ ನಡೆಯುತ್ತಿರುವ ಉಪಟಳ ವಿರೋಧಿಸಿ `ನಮ್ಮ ಆಹಾರ ನಮ್ಮ ಹಕ್ಕು’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು. ಇಲ್ಲಿನ ಕೊನೆಯ ಕಾರ್ಯಕ್ರಮದಲ್ಲಿ ಅವರೊಟ್ಟಿಗೆ ಅನಂತಮೂರ್ತಿಯವರೂ ಇದ್ದರು. ಭಾರತದಲ್ಲಿ ಇಬ್ಬರು ಜ್ಞಾನಪೀಠ ಲೇಖಕರು ಇಂತಹದೊಂದು ಸಾರ್ವಜನಿಕ ಪ್ರತಿರೋಧದ ಕಾರ್ಯಕ್ರಮದಲ್ಲಿ ಒಟ್ಟಿಗೆ ಭಾಗವಹಿಸಿದ್ದು ಅಪೂರ್ವ ಸಂಗತಿ.
ನನಗೆ ಅವರ ಜತೆ ಮೊದಲ ಮುಖಾಬಿಲೆ ಆಗಿದ್ದು ಬಾಬಾಬುಡನಗಿರಿಗೆ ಮಾಡಿದ ಪಯಣದಲ್ಲಿ. ಸೂಫಿಗಳ ಮೇಲೆ ತುಸು ಅಧ್ಯಯನ ಮಾಡಿದವನೆಂದು ನನ್ನನ್ನು ಅವರೊಟ್ಟಿಗೆ ಕೂರಿಸಲಾಗಿತ್ತು. ಅವರ ಗಂಭೀರ ಸ್ವಭಾವದ ಬಗ್ಗೆ ತಿಳಿದಿದ್ದ ನಾನು, ಅವರಾಗಿ ಏನಾದರೂ ಕೇಳಿದರೆ ಮಾತ್ರ ಹೇಳಬೇಕೆಂದು, ಸಹಪಯಣದ ಖುಶಿಯನ್ನು ಅನುಭವಿಸುತ್ತ ಜತೆಗೆ ಕೂತಿದ್ದೆ. ಗಿರಿಯನ್ನು ವಾಹನ ಹತ್ತುವಾಗ, ನೆತ್ತಿಮೇಲಣ ಶಿಖರಗಳನ್ನೂ ಕೆಳಗಿನ ಕಣಿವೆಗಳನ್ನೂ ನೋಡುತ್ತ ಕಾರ್ನಾಡರು `ಓಹ್ ಎಷ್ಟೊಂದು ಸುಂದರವಾಗಿದೆಯಲ್ಲ’’ ಎಂದು ಉದ್ಗರಿಸುತ್ತ ಮಗುವಿನಂತೆ ಪುಟಿಯುತ್ತಿದ್ದರು.
ಅವರೊಬ್ಬ ಸೆಲೆಬ್ರಿಟಿಯಾದರೂ ಸರಳವ್ಯಕ್ತಿ. ಅಭಿನಯ ಅವರ ವೃತ್ತಿಯಾದರೂ ವ್ಯಕ್ತಿಯಾಗಿ ತೋರಿಕೆಯೇ ಇಲ್ಲದ ನೇರಗುಣದವರು. ಗೋಕರ್ಣದಲ್ಲಿ ನಡೆದ ಗೌರೀಶ ಕಾಯ್ಕಿಣಿಯವರ ಶತಮಾನೋತ್ಸವ ಕಾರ್ಯಕ್ರಮದಲ್ಲಿ ನಮ್ಮನ್ನು ತೋಟದ ಮನೆಯೊಂದರಲ್ಲಿ ಉಳಿಸಲಾಗಿತ್ತು. ಕಾರ್ನಾಡರು ನನಗಿಂತಲೂ ವೈದ್ಯೆಯಾದ ನನ್ನ ಮಗಳ ಜತೆ ಹೆಚ್ಚು ಮಾತನಾಡಿದರು. ಆದಿನ ನಾನು ಅವರ `ಆಡಾಡ್ತಾ ಆಯುಷ್ಯ’ ಒಳಗೊಂಡಂತೆ (ಬೆರಗು ಹುಟ್ಟಿಸುವ ಭಾಷೆಯುಳ್ಳ ವಿಶಿಷ್ಟ ಗದ್ಯಶೈಲಿಯ ಕೃತಿಯಿದು) ಕನ್ನಡದ ಆತ್ಮಕತೆಗಳ ಬಗ್ಗೆ ಉಪನ್ಯಾಸ ಮಾಡಿದೆ. ಬಸಳೆಸೊಪ್ಪಿನ ಹೊರೆಯನ್ನು ಅವರ ಕೈಯಿಂದ ಉಡುಗೊರೆ ಕೊಡಿಸಲಾಯಿತು. ಉಪನ್ಯಾಸದ ಬಳಿಕ ಕಾರ್ನಾಡರು ಕೇಳಿದರು: “ಭಾರತದ ಮೊಟ್ಟಮೊದಲ ಆತ್ಮಕಥೆ `ಅರ್ಧಕಥಾನಕ’ ಓದಿದ್ದೀರಾ?” “ಇಲ್ಲ” “ನೀವು ಓದಲೇಬೇಕು. ಅಪರೂಪದ ಪುಸ್ತಕ. 16ನೇ ಶತಮಾನದ್ದು’’. ಬೆಂಗಳೂರಿಗೆ ಹೋದೊಡನೆ ನೆರಳಚ್ಚನ್ನು ಕಳಿಸಿಕೊಟ್ಟರು. ವ್ಯವಹಾರ ಪ್ರಜ್ಞೆಯಿಲ್ಲದವನೂ ಕಾವ್ಯಪ್ರೇಮಿಯೂ ಆದ ಜೈನ ವ್ಯಾಪಾರಿಯೊಬ್ಬನ ರೋಚಕ ಅನುಭವಗಳ ಕಥನವದು.
ಹೀಗೆ ಸಣ್ಣಗೆ ಆರಂಭವಾದ ಪರಿಚಯ `ಅಮೀರಬಾಯಿ ಕರ್ನಾಟಕಿ’ ಪುಸ್ತಕದ ಸನ್ನಿವೇಶದಲ್ಲಿ ಧಕ್ಕೆಗೊಳಗಾಯಿತು. ನಾನು ಅಮೀರಬಾಯಿ ಸಂಶೋಧನೆಗೆಂದು ಪುಣೆ ಮುಂಬೈ ತಿರುಗಾಡುವಾಗ, ಮಹಾರಾಷ್ಟ್ರದಲ್ಲಿ ಕಾರ್ನಾಡರಿಗೆ ಸಿನಿಮಾ ಮತ್ತು ಸಾಹಿತ್ಯ ಕ್ಷೇತ್ರದಲ್ಲಿರುವ ಮರ್ಯಾದೆಯನ್ನು ಗಮನಿಸಿದ್ದೆ. ಮರಾಠಿ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾಡಿದ ದಿಟ್ಟ ಭಾಷಣವು-ಅದರಲ್ಲಿ ರಾಜಕೀಯ ಪಕ್ಷಗಳು ಸೈನೀಕರಣಗೊಳ್ಳುವುದರ ಬಗ್ಗೆ ಕಟುವಾದ ವಿಮರ್ಶೆಯಿದೆ- ಅಲ್ಲಿನ ಲೇಖಕರು ನೆನಪಿಟ್ಟಿದ್ದರು. ಕನ್ನಡ-ಮರಾಠಿ ಸಾಂಸ್ಕøತಿಕ ಬಾಂಧವ್ಯದ ಕೊಂಡಿಯಾಗಿದ್ದ ಅಮೀರಬಾಯಿ ಕುರಿತ ಹೊತ್ತಗೆಯನ್ನು ಅವರೇ ಬಿಡುಗಡೆ ಮಾಡಿದರೆ ಚೆನ್ನವೆನಿಸಿತು. ಹೇಗೂ `ಸಾಹಿತ್ಯ ಸಂಭ್ರಮ’ದ ಕಾರ್ಯಕ್ರಮಕ್ಕಾಗಿ ದಿನ ಮೊದಲೇ ಧಾರವಾಡಕ್ಕೆ ಬರುತ್ತಿದ್ದರು. ಹಿಂದಿನ ದಿನ ಸಂಜೆ ಬಿಡುಗಡೆ ಮಾಡಲು ಸಾಧ್ಯವೇ ಎಂದು ಕೇಳಿದೆ. ಕೂಡಲೇ ಒಪ್ಪಿದರು.
ಆದರೆ ಸಾಹಿತ್ಯ ಸಂಭ್ರಮ ಕಾರ್ಯಕ್ರಮದ ಸ್ವರೂಪದ ಬಗ್ಗೆ ಭಿನ್ನಮತ ವ್ಯಕ್ತಪಡಿಸಿ ನಾನು ಭಾಗವಹಿಸದೆ ಹೊರಗುಳಿದೆ. ಕಾರ್ನಾಡರು ಕರೆ ಮಾಡಿ “ನೀವು ಸಂಭ್ರಮಕ್ಕೆ ಬರಲು ನಿರಾಕರಿಸಿದರಂತೆ. ನಿಜವೇ?’’ ಎಂದು ಕೇಳಿದರು. ಹೌದೆಂದೆ. `ಹಾಗಿದ್ದಲ್ಲಿ ನಿಮ್ಮ ಕಾರ್ಯಕ್ರಮಕ್ಕೆ ಬರಲಾರೆ, ಕ್ಷಮಿಸಿ’ ಎಂದರು. `ಆಗಲಿ’ ಎಂದೆ. ಅವರಿಗೆ ತಾನು ಹಾಗೆ ಮಾಡಿದ್ದು ಸರಿಯಲ್ಲ ಅನಿಸಿರಬೇಕು. ಧಾರವಾಡದಲ್ಲಿರುವ ತಮ್ಮ ಒಡನಾಡಿ ಸುರೇಶ ಕುಲಕರ್ಣಿಯವರೊಟ್ಟಿಗೆ ತಮ್ಮ ಚಡಪಡಿಕೆ ಹಂಚಿಕೊಂಡರಂತೆ. ಆದರೆ ನಾನು ಕಾರ್ಯಕ್ರಮ ಮುಗಿದ ಬಳಿಕ ಪುಸ್ತಕದ ಗೌರವಪ್ರತಿ ಕಳಿಸಿಕೊಟ್ಟೆ. ಚೆನ್ನಾಗಿ ಬಂದಿದೆ ಎಂದು ಪತ್ರ ಬರೆದರು. ಅವರು ಆ ಘಟನೆಯನ್ನು ಮನಸ್ಸಿನಲ್ಲಿ ಇಟ್ಟುಕೊಂಡಂತೆ ಕಾಣಲಿಲ್ಲ. ತಮ್ಮ ಪರಿಚಿತರು ಯಾರಾದರೂ ಹಂಪಿ ನೋಡಬಯಸಿದರೆ, ನನ್ನ ಸಲಹೆ ಪಡೆಯಲು ಹೇಳುತ್ತಿದ್ದರು. ಒಮ್ಮೆ ಅವರ ನಾಟಕಗಳಲ್ಲಿ ನಟಿಸುವ ಬಂಗಾಳದ ನಟಿ ಹಂಪಿಯಲ್ಲಿ ಹಣ ಪಾಸ್‍ಪೋರ್ಟುಳ್ಳ ಪರ್ಸನ್ನು ಕಳೆದುಕೊಂಡರು. ಕಾರ್ನಾಡರು ಕರೆಮಾಡಿ ಆಕೆಗೆ ಬೆಂಗಳೂರಿನ ತನಕ ಬರಲು ಸಹಾಯ ಮಾಡುವುದು ಸಾಧ್ಯವೇ ಎಂದು ಕೇಳಿದರು.
ಸಂವಾದಕ್ಕೆ ಸದರವಾಗಿ ಸಿಗುವ ಲೇಖಕರಲ್ಲದ ಗಿರೀಶ್, ಬಾಳಿನ ಕೊನೆಯ ದಿನಗಳಲ್ಲಿ ತಮ್ಮ ಲಾಗಾಯ್ತಿನ ಸ್ವಭಾವಕ್ಕೆ ಪ್ರತಿಯಾಗಿ, ಸಾಂಸ್ಕøತಿಕ ನಾಯಕತ್ವದ ದನಿ ಮೊಳಗಿಸಿದರು. ತಮಗೆ ತಪ್ಪೆಂದು ಕಂಡ ವಿಷಯಗಳಲ್ಲಿ ಪರಿಣಾಮ ಲೆಕ್ಕಿಸದೆ ದಿಟ್ಟತನದ ನಿಲುವು ತೆಗೆದುಕೊಂಡರು. ತಮ್ಮ ತಾತ್ವಿಕ ರಾಜಕೀಯ ನಿಲುವಿಗೆ ವಿರುದ್ಧವಿರುವ ದೊಡ್ಡ ಸಾಧಕರನ್ನೂ ಲೆಕ್ಕಿಸದೆ ಶಾಬ್ದಿಕ ಹಿಂಸೆಗೆ ಗುರಿಪಡಿಸುವ ಈಚಿನ ಪದ್ಧತಿಗೆ ಬಲಿಯೂ ಆದರು. ಗೌರಿಲಂಕೇಶ್ ಸ್ಮರಣ ಕಾರ್ಯಕ್ರಮಕ್ಕೆ `ನಾನೂ ನಗರ ನಕ್ಸಲ್’ ಎಂದು ಕೊರಳಿಗೆ ಬೋರ್ಡು ಸಿಕ್ಕಿಸಿಕೊಂಡು ಬಂದ ಸನ್ನಿವೇಶ ನೆನಪಾಗುತ್ತಿದೆ. ಅದು ತೀರಾ ನಾಟಕೀಯವಾಗಿತ್ತು. ಆದರೆ ಅವರ ಸ್ಪಷ್ಟತೆ ಧೈರ್ಯ ಸಿಟ್ಟು ಹತಾಶೆ ಆಕ್ಟಿವಿಸಂಗಳ ಆತ್ಯಂತಿಕ ರೂಪಕವಾಗಿತ್ತು. ಆರೋಗ್ಯ ಸರಿಯಿರಲಿಲ್ಲ. ಕೈಯಲ್ಲಿ ಆಮ್ಲಜನಕದ ಸಿಲಿಂಡರನ್ನು ಹಿಡಿದಿದ್ದರು. ಅಪರಾಧಿಗಳ ಕೊರಳಿಗೆ ಫಲಕ ತೂಗುಹಾಕುವುದು ಕ್ರಮವಿದೆ. ಶಿಲುಬೆಗೇರಿದ ಕ್ರಿಸ್ತನ ಕೊರಳಿಗೂ `ನಜರೇತಿನ ಅರಸ’ ಎಂಬ ವ್ಯಂಗ್ಯದ ಫಲಕ ತೂಗಿಸಲಾಗಿತ್ತು. ಆದರೆ ಕಾರ್ನಾಡರು ಇದನ್ನು ಸ್ವತಃ ಧಾರಣಮಾಡಿದ್ದರು. `ವಿಚಾರ ಮಾಡುವುದು, ಪ್ರಭುತ್ವವನ್ನು ವಿಮರ್ಶಿಸುವುದು, ಮತಧರ್ಮದ ಹಿಂಸೆ ಖಂಡಿಸುವುದು ಅಪರಾಧವಾದರೆ ನಾನೂ ಅಪರಾಧಿ’ ಎಂಬ ನಾಟಕೀಯ ತಪ್ಪೊಪ್ಪಿಗೆಯನ್ನು ಅದು ಒಳಗೊಂಡಿತ್ತು. ಜನಪದ ಮಿತ್ ಮತ್ತು ಪುರಾಣಗಳನ್ನು ನಾಟಕಗಳಿಗೆ ದುಡಿಸಿಕೊಂಡ ಕಾರ್ನಾಡರು ನಾಗರಿಕ ಹಕ್ಕುಗಳ ವಿಷಯ ಬಂದರೆ, ಮುಕ್ತ ಸಮಾಜದ ಪರವಾದ ಆಕ್ಸಫರ್ಡ್ ಪದವೀಧರರೇ. ನಾಗರಿಕ ಸಮಾಜವೊಂದರಲ್ಲಿ ಸಹಜವಾಗಿ ಇರಬೇಕಾದ ಸ್ವಾತಂತ್ರ್ಯದ ಪರವಾಗಿ ಅವರು ಸದಾ ಆಲೋಚಿಸುತ್ತಿದ್ದರು. ಫಲಕದಲ್ಲಿರುವ ಬರೆಹವು ಸ್ವಹಸ್ತಾಕ್ಷರದಲ್ಲಿತ್ತು. ದೇಶದ ಸುದ್ದಿಯಾಗಬೇಕೆಂದೇ ಇಂಗ್ಲೀಶಿನಲ್ಲಿತ್ತು. ಅದರಲ್ಲಿ ದೇಶೀಭಾಷೆಯ ಲೇಖಕ ಎಂಬುದನ್ನು ದಾಖಲಿಸುವಂತೆ `ನಾನು ಕೂಡ’ ಎಂಬ ಎರಡು ಪದಗಳು ಕನ್ನಡದಲ್ಲಿದ್ದವು. ಉಸಿರ್ಗಟ್ಟಿಸುವ ಸನ್ನಿವೇಶಕ್ಕೆ ತುಡಿಯುವಂತೆ ಕೈಯಲ್ಲಿ ಆಕ್ಸಿಜನ್ ಸಿಲಿಂಡರಿತ್ತು.
ಅದೊಂದು ಅಭಿಮಾನ ಉಕ್ಕಿಸುವ ಮತ್ತು ಎದೆಕರಗಿಸುವ ಚಿತ್ರ; ಸಮಾಜದ ಹದುಳಕ್ಕಾಗಿ ತನ್ನ ಬೇನೆಯಲ್ಲೂ ಲೇಖಕ ರಿಸ್ಕ್ ತೆಗೆದುಕೊಳ್ಳುವ ಪ್ರತೀಕ. ಕಾರ್ನಾಡರಲ್ಲಿ ಲೆಕ್ಕಾಚಾರ ದ್ವಂದ್ವ ಇರಲಿಲ್ಲ. ಅಂತರಂಗಕ್ಕೆ ಸರಿಯೆನಿಸಿದ್ದನ್ನು ಹೇಳುವ-ಮಾಡುವ ಪ್ರಾಮಾಣಿಕತೆಯಿತ್ತು. ಇದು ಅವರ ಶವಸಂಸ್ಕಾರದಲ್ಲೂ ವ್ಯಕ್ತವಾಯಿತು. ಅವರು ಸತ್ತು ದೊಡ್ಡವರಾದವರು; ಅವರನ್ನು ಕೆಟ್ಟದಾಗಿ ನಡೆಸಿಕೊಂಡು ಬದುಕಿರುವ ನಾವು ಸಣ್ಣವರಾದೆವು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು
~ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ
ಆಗಸ್ಟ್ ದಿನಾಂಕ 8 ಮತ್ತು 9ನೇ ತಾರೀಕು,ಸಾಹಿತ್ಯದ ಬೃಹತ್ ಹಡಗೊಂದು ಶ್ರೀಮಂತನಗರಿ ದಾವಣಗೆರೆ. ಜ್ಞಾನದ ಗೂಡು ಸಾಹಿತ್ಯ ಕಲಾರಸಿಕರ ಬೀಡು. ವಿವಿಧ ಖಾದ್ಯಗಳ ರಸದೌತಣದ ನಾಡು,ಸರಸ್ವತಿ ನೆಲೆಸಿದ ನಾಡು ದಾವಣಗೆರೆ.
ಎಲ್ಲ ಕ್ಷೇತ್ರದಲ್ಲೂ ಮುಂಚೂಣಿಯಲ್ಲಿರುವ ಬಹು ತಾಳ್ಮೆಯ ಕುಟುಂಬವನ್ನು ನಿರ್ವಹಿಸಿಕೊಂಡು ಸಂಸಾರದ ನೌಕೆಯನ್ನು ಸಾಗಿಸುತ್ತಾ ಅದರ ಜೊತೆಗೆ ತಮ್ಮ ಮನೋರಂಜನೆ ಸಾಹಿತ್ಯ ಸಮಾಜ ಜ್ಞಾನ ವಿಜ್ಞಾನಗಳ ಸಕಲ ಕಲಾವಿದ್ಯೆಗಳಲ್ಲಿ ತೊಡಗಿಸಿಕೊಂಡಿರುವ ನಮ್ಮೆಲ್ಲರ ಮಹಿಳೆಯರ ಪರವಾಗಿ ಈ ನಮ್ಮ ಕನ್ನಡ ಸಾಹಿತ್ಯ ಪರಿಷತ್ತು ಒಂದು ಅತ್ಯದ್ಭುತವಾದ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಕನ್ನಡ ಸಾಹಿತ್ಯ ಪರಿಷತ್ ಶ್ರೀ ಬಿ ವಾಮದೇವಪ್ಪ ತೊಗಲೇರಿ ಅಧ್ಯಕ್ಷರ ಸಮ್ಮುಖದಲ್ಲಿ ಈ ಮಹಿಳಾ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು . ಸಮ್ಮೇಳನದ ಅಧ್ಯಕ್ಷರು ಮಹಾಪೋಷಕರು ಡಾಕ್ಟರ್ ಪ್ರಭಾ ಮಲ್ಲಿಕಾರ್ಜುನ್, ಹಾಗೆಯೇ ಉದ್ಘಾಟಕರಾಗಿ ಮಹಿಳಾ ಆಯೋಗದ ಡಾಕ್ಟರ್ ನಾಗಲಕ್ಷ್ಮಿ ಚೌದರಿ, ಪ್ರಧಾನ ಸಂಚಾಲಕರು ರಾಜ ಯೋಗಿನಿ ಬ್ರಹ್ಮಕುಮಾರಿ ನೀಲಾಜಿ ಅವರೆಲ್ಲರಿಗೂ ಸ್ವಾಗತವನ್ನು ಬಯಸುತ್ತಾ ,
ಸ್ವಾಗತ ಸಮಿತಿ, ಹಣಕಾಸು ಸಮಿತಿ ,ಸಾಹಿತ್ಯ ಸಮಿತಿ, ಆಹಾರ ಸಮಿತಿ ,ಸಾಂಸ್ಕೃತಿಕ ಸಮಿತಿ ,ವೇದಿಕೆ ಸಮಿತಿ, ಸ್ಮರಣ ಸಂಚಿಕೆ ಸಮಿತಿ, ಪ್ರಚಾರ ಸಮಿತಿ, ಶಿಸ್ತು ಸಮಿತಿ ಮೆರವಣಿಗೆ ಸಮಿತಿ,ಪುಸ್ತಕ ಮಳಿಗೆ ಸಮಿತಿ ,ಅತಿಥಿ ಸತ್ಕಾರ ಸಮಿತಿ, ಸ್ಪರ್ಧಾ ಸಮಿತಿ, ಎಲ್ಲದಕ್ಕೂ ಸಹಕಾರ ಕೊಟ್ಟಂತಹ ಶ್ರೀ ಸಮರ್ಥ್ ಶಾಮನೂರ್ ಮಲ್ಲಿಕಾರ್ಜುನ್ ಶಾಸಕರು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ, ಶ್ರೀ ಸೋಮೇಶ್ವರ ಸಮೂಹ ಸಂಸ್ಥೆಗಳು.
ಎಲ್ಲ ಕಾರ್ಯಕ್ರಮಗಳನ್ನು ಸುಸಜ್ಜಿತವಾಗಿ ನಡೆಸಿ ಕೊಡುತ್ತಿರುವ ಶ್ರೀಮತಿ ಸುಮತಿ ಜಯಪ್ಪ, ಶ್ರೀಮತಿ ಯಶಾ ದಿನೇಶ್ ,ಶ್ರೀಮತಿ ವೀಣಾ ಕೃಷ್ಣಮೂರ್ತಿ , ಶ್ರೀಮತಿ ಸತ್ಯಭಾಮ ಮಂಜುನಾಥ್, ಶ್ರೀಮತಿ ಮಲ್ಲಮ್ಮ ಎಂ ಎಸ್ ,ಶ್ರೀಮತಿ ನೀಲಗುಂದ ಜಯಮ್ಮ, ಶ್ರೀಮತಿ ಜಯಲಕ್ಷ್ಮಿ ಮಹೇಶ್, ಶ್ರೀಮತಿ ಪ್ರೇಮ ಸೋಮಶೇಖರ್ ಹೇಮ ಗಣೇಶ್ ಶೇಟ್, ಸುನಿತಾ ಪ್ರಕಾಶ್, ವರದಿಗಾರರಾದ ಭಾರತಿ ಎಚ್ ,ಹಾಗೆ ಎ ಬಿ ರುದ್ರಮ್ಮ, ಆಮಂತ್ರಣ ಪತ್ರಿಕೆ ಎಲ್ಲಾ ಗೆಳತಿಯರು ಇವರೊೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕೊಡುತ್ತಿರುವ ಎಲ್ಲ ಪ್ರತಿಭೆಗಳಿಗೂ ಹಾಗೂ ಕವಿಗೋಷ್ಠಿ ಕವಿತೆಗಳನ್ನು ವಾಚಿಸುವವರೆಗೂ ಹಾಗೆಯೇ ಸಾಹಿತ್ಯ ರತ್ನ ಪ್ರಶಸ್ತಿ ಪ್ರಧಾನ, ಪಡೆಯುತ್ತಿರುವ ಎಲ್ಲ ಸಹೋದರಿಯರಿಗೂ ಅಭಿನಂದನೆಗಳು ಹಾಗೆ ಎಲ್ಲ ಮಹಿಳಾ ಮಣಿಗಳ ಆಗಮನಕ್ಕೆ ಶುಭವನ್ನು ಕೋರುತ್ತಿರುವ ಶ್ರೀಮತಿ ವೀಣಾ ಮಹಂತೇಶ್ ಬಿ ಎಮ್ ದಾವಣಗೆರೆ.
ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ.



