ಬಹಿರಂಗ
ಚೂರಾದದ್ದು ಕಲ್ಲಂಗಡಿ ಬೆತ್ತಲೆಯಾಗಿದ್ದು ಶ್ರಮಿಕ ಪ್ರಜ್ಞೆ
ಜೀವನೋಪಾಯವನ್ನು ಕಸಿಯುವ ಯಾವುದೇ ಕೃತ್ಯವನ್ನು ಖಂಡಿಸುವುದು ನಾಗರಿಕತೆಯ ಲಕ್ಷಣ
- ನಾ ದಿವಾಕರ
ಯಾವುದೇ ಒಂದು ಸಮಾಜವನ್ನು ʼ ನಾಗರಿಕ ʼ ಎಂದು ಪರಿಭಾವಿಸಬೇಕಾದರೆ, ಕೆಲವು ಲಕ್ಷಣಗಳು ಅವಶ್ಯವಾಗಿ ಇರಬೇಕಾಗುತ್ತವೆ. ಆಡಳಿತ ವ್ಯವಸ್ಥೆಯನ್ನು ನಿಯಂತ್ರಿಸುವ ಅಧಿಕಾರ ಕೇಂದ್ರಗಳು ಯಾವುದೇ ಮಾರ್ಗಗಳನ್ನು ಅನುಸರಿಸುತ್ತಿದ್ದರೂ, ಸಾರ್ವಜನಿಕ ಬದುಕಿನಲ್ಲಿ ತಮ್ಮ ಕಸುಬು, ವೃತ್ತಿ, ನೌಕರಿ ಅಥವಾ ವ್ಯಾಪಾರವನ್ನು ನಂಬಿ ಬದುಕು ಸವೆಸುವ ಸಾಮಾನ್ಯ ಜನರ ನಿತ್ಯ ಬದುಕಿನ ಮಟ್ಟಿಗೆ ಅದು ನಗಣ್ಯವಾಗಿರುತ್ತದೆ.
ಪ್ರಜಾತಂತ್ರವಾಗಲೀ, ನಿರಂಕುಶಾಧಿಕಾರವಾಗಲೀ, ಸರ್ವಾಧಿಕಾರ ಅಥವಾ ಸೇನಾಡಳಿತವೇ ಆಗಲಿ, ತಮ್ಮ ಬದುಕು ಸವೆಸಲು ನಿತ್ಯ ಕಾಯಕವನ್ನೇ ನಂಬಿ ನಡೆಯುವ ಅಸಂಖ್ಯಾತ ಜನರಿಗೆ ತಮ್ಮ ಸುತ್ತಲಿನ ಸಮಾಜ ಮತ್ತು ಆ ಕ್ಷಣದ ವಾತಾವರಣವೇ ಮುಖ್ಯವಾಗಿರುತ್ತದೆಯೇ ಹೊರತು ಆಡಳಿತ ವ್ಯವಸ್ಥೆಯ ಚೌಕಟ್ಟುಗಳಲ್ಲ. ಆದರೆ ಈ ಸಾಮಾನ್ಯ ಜನತೆಯ ಜೀವನ ನಿರ್ವಹಣೆಯಲ್ಲಿ ಮುಖ್ಯ ಪಾತ್ರ ವಹಿಸುವ ಸಾಮುದಾಯಿಕ ಅಸ್ಮಿತೆಗಳು, ಜಾತಿ, ಮತ, ಧರ್ಮ, ಪಂಥ ಮತ್ತು ಭಾಷಿಕ ನೆಲೆಯಲ್ಲಿ ಶ್ರೀಸಾಮಾನ್ಯನನ್ನು ಕಾಡುತ್ತಲೇ ಇರುತ್ತದೆ.
ಈ ಕಾಡುವಿಕೆಯಲ್ಲೇ ಜಾತಿ ಮತಗಳ ಸಾಂಸ್ಥಿಕ ನೆಲೆಗಳು ಜನಸಮುದಾಯಗಳ ಮೇಲೆ ತಮ್ಮ ಹಿಡಿತ ಸಾಧಿಸಲು ಸಾಧ್ಯವಾಗುತ್ತದೆ. ವ್ಯಕ್ತಿಗತ ಬದುಕಿನಲ್ಲಿ ಯಾವುದೇ ಪಾತ್ರ ವಹಿಸದ ಅಸ್ಮಿತೆಗಳು ಸಹಜವಾಗಿಯೇ ಸಾಮುದಾಯಿಕ ಬದುಕಿನ ಒಂದು ಭಾಗವಾಗಿ, ಮನುಷ್ಯನನ್ನು ಸಂಗ-ಜೀವಿಯನ್ನಾಗಿ ಮಾಡುತ್ತದೆ.
ಈ ಸಂಗ-ಜೀವಿಯ ಬೇಕು ಬೇಡಗಳನ್ನು ಪೂರೈಸುವ ನೈತಿಕ ಹೊಣೆಗಾರಿಕೆ ಆಡಳಿತ ವ್ಯವಸ್ಥೆಯ ಮೇಲಿದ್ದರೂ, ನಿತ್ಯ ಬದುಕಿನ ಹಾದಿಯಲ್ಲಿ ಜನಸಮುದಾಯಗಳು ತಮ್ಮೊಳಗಿನ ಸ್ನೇಹ ಸೇತುವೆಗಳನ್ನು ಗಟ್ಟಿಗೊಳಿಸುತ್ತಾ ತಮ್ಮೊಳಗಿನ ವೈವಿಧ್ಯತೆಯನ್ನೇ ಬಂಡವಾಳವನ್ನಾಗಿರಿಸಿಕೊಂಡು, ತಮ್ಮ ನಡುವಿನ ಭಿನ್ನತೆಗಳನ್ನು ಬದಿಗಿರಿಸುತ್ತಾ, ಪರಸ್ಪರ ಕಷ್ಟ ಸುಖಗಳಿಗೆ ಹೆಗಲು ನೀಡುತ್ತಾ ಬದುಕು ಸವೆಸುತ್ತಾರೆ.
ಇದು ದುಡಿಯುವ ವರ್ಗಗಳಲ್ಲಿ ಸಾಮಾನ್ಯವಾಗಿ ಕಂಡುಬರುವಂತಹ ಸಾರ್ವತ್ರಿಕ ಲಕ್ಷಣ. ದೈಹಿಕ ಮತ್ತು ಬೌದ್ಧಿಕ ಶ್ರಮದಲ್ಲಿ ತೊಡಗಿರುವವರಷ್ಟೇ ಅಲ್ಲದೆ, ಜೀವನೋಪಾಯಕ್ಕಾಗಿ, ಜೀವನ ನಿರ್ವಹಣೆಗಾಗಿ ಸಣ್ಣ ಪುಟ್ಟ ವ್ಯಾಪಾರವನ್ನು ಅವಲಂಬಿಸಿ ಬದುಕುವ ಕೋಟ್ಯಂತರ ಜನರು ಈ “ಶ್ರಮಜೀವಿ ವರ್ಗ”ಕ್ಕೇ ಸೇರಿದವರಾಗಿರುತ್ತಾರೆ. ಭಾರತದಂತಹ ಸಾಂಪ್ರದಾಯಿಕ, ಶ್ರೇಣೀಕೃತ ಸಮಾಜದಲ್ಲೂ, ಗುಪ್ತವಾಹಿನಿಯಂತೆ ಹರಿಯುವ ಅಸ್ಪೃಶ್ಯತೆ ಮತ್ತು ಜಾತೀಯತೆಯಂತಹ ವಿಷತೊರೆಗಳ ಹೊರತಾಗಿಯೂ, ಈ ಶ್ರಮಜೀವಿ ವರ್ಗವು ಒಂದಾಗಿ ಬದುಕುವುದು ಸಾಧ್ಯ ಎನ್ನುವುದನ್ನು ಇತಿಹಾಸ ನಿರೂಪಿಸಿದೆ.
ಅಸ್ಪೃಶ್ಯ ಸಮುದಾಯಗಳು, ತಮ್ಮ ಮೇಲೆ ನಿರಂತರವಾಗಿ ನಡೆಯುವ ಜಾತಿ ದೌರ್ಜನ್ಯಗಳನ್ನೂ ಸಹ ಬದುಕಿನ ಒಂದು ಭಾಗ ಎಂದು ಭಾವಿಸುವ ದುರಂತ ಮನಸ್ಥಿತಿಯೇ ಆವರಿಸಿರುವುದರಿಂದ, ಈ ಸಮುದಾಯಗಳ ಸಹಿಷ್ಣುತೆಯೂ ಹೆಚ್ಚಾಗಿಯೇ ಕಾಣುತ್ತದೆ. ಸಮಕಾಲೀನ ಸಮಾಜದಲ್ಲಿ ಒಂದು ಸೌಹಾರ್ದ ವಾತಾವರಣ ಇದೆ ಎಂದರೆ ಈ ಸಮಾಜ ದೌರ್ಜನ್ಯ ಮುಕ್ತವಾಗಿದೆ ಎಂದರ್ಥವಲ್ಲ ಅಥವಾ ಅಸ್ಪೃಶ್ಯತೆ, ಸಾಮಾಜಿಕ ಬಹಿಷ್ಕಾರದಂತಹ ಅಮಾನುಷ ಪದ್ಧತಿಗಳು ಇಲ್ಲವಾಗಿದೆ ಎಂದೂ ಹೇಳಲಾಗುವುದಿಲ್ಲ.
ತಳಸಮುದಾಯಗಳನ್ನು ನಿರಂತರವಾಗಿ ಕಾಡುವ ಬಡತನ ಮತ್ತು ಆರ್ಥಿಕ ಪರಾವಲಂಬನೆಯೇ ಅವರಲ್ಲಿನ ಸಹಿಷ್ಣುತೆಯನ್ನೂ ಅನಿವಾರ್ಯವಾಗಿ ಹೆಚ್ಚಿಸುತ್ತದೆ. ಈ ಶೋಷಿತ ಸಮುದಾಯಗಳ ನಡುವೆ ಉದ್ಭವಿಸಬಹುದಾದ ಬಂಡಾಯವನ್ನು, ಪ್ರತಿರೋಧವನ್ನು ಅಡಗಿಸುವ ಸಲುವಾಗಿಯೇ ಆಳುವ ವರ್ಗಗಳು ಮತ್ತು ಸಮಾಜದ ಪ್ರಬಲ ವರ್ಗಗಳು ಜಾತಿ-ಮತಗಳ ಅಸ್ಮಿತೆಗಳನ್ನು ಬಳಸುತ್ತಿರುತ್ತವೆ. ಜಾತಿ, ಮತ, ಪಂಥ ಅಥವಾ ಭಾಷೆಯ ಆಧಾರದ ಮೇಲೆ ಸಾಂಸ್ಥಿಕ, ಸಂಘಟನಾತ್ಮಕ ಶಕ್ತಿಗಳು ಈ ವರ್ಗವನ್ನು ವಿಭಜಿಸಿ, ವಿಘಟನೆಗೊಳಪಡಿಸುವ ಮೂಲಕ ಸಮುದಾಯಗಳ ಮೇಲೆ, ಸಮಾಜದ ಮೇಲೆ ತಮ್ಮ ಆಧಿಪತ್ಯವನ್ನು ಸಾಧಿಸಲು ಸದಾ ಯತ್ನಿಸುತ್ತಲೇ ಇರುತ್ತವೆ.
ಈ ಶಕ್ತಿಗಳಿಂದ ಅಡ್ಡಡ್ಡಲಾಗಿ ಸೀಳಲ್ಪಡುವ ಶ್ರಮಜೀವಿ ವರ್ಗಗಳು ತಮ್ಮ ನಡುವೆ ನಿರ್ಮಿಸಲಾಗುವ ಬೌದ್ಧಿಕ ಮತ್ತು ಭೌತಿಕ ಗೋಡೆಗಳನ್ನು ಭಂಜಿಸದೆ, ಭೇದಿಸದೆ ಹೋದರೆ ಈ ಗೋಡೆಗಳೇ ಕಾಲಕ್ರಮೇಣ ದೊಡ್ಡ ಕಂದರಗಳಾಗಿ, ಸಮುದಾಯಗಳ ನಡುವೆ ಶಾಶ್ವತವಾದ ಬೇಲಿಗಳಾಗಿ ಪರಿಣಮಿಸಿಬಿಡುತ್ತವೆ. ಆಡಳಿತ ವ್ಯವಸ್ಥೆಯನ್ನು ನಿರ್ವಹಿಸುವ ಅಧಿಕಾರ ಕೇಂದ್ರಗಳು ಪ್ರಜಾಪ್ರಭುತ್ವ ಮೌಲ್ಯಗಳಿಗೆ ಬದ್ಧರಾಗಿರುವವರೆಗೂ ಜನಸಮುದಾಯಗಳು ತಮ್ಮ ನೆಮ್ಮದಿಯ ಬದುಕನ್ನು ತಮ್ಮದೇ ಆದ ಅಸ್ಮಿತೆಗಳೊಂದಿಗೆ ಸವೆಸಲು ಸಾಧ್ಯ.
ಆದರೆ ಒಮ್ಮೆ ಈ ಅಧಿಕಾರ ಕೇಂದ್ರಗಳು ತೀವ್ರತೆರನಾದ ನಿರಂಕುಶಾಧಿಕಾರಕ್ಕೊಳಗಾದಾಗ, ನಿರ್ದಿಷ್ಟ ಮತಾಚರಣೆಯ ಸಾಂಸ್ಕೃತಿಕ ಚೌಕಟ್ಟುಗಳಲ್ಲಿ ಬಂಧಿಸಲ್ಪಟ್ಟಾಗ ಮತಾಂಧತೆ ಮತ್ತು ಮತೀಯವಾದವೇ ಆಡಳಿತ ನೀತಿಗಳಾಗಿಬಿಡುತ್ತವೆ. ಇಂತಹ ವಾತಾವರಣದಲ್ಲಿ ಶ್ರಮಜೀವಿ ವರ್ಗಗಳನ್ನು ಅಸ್ಮಿತೆಗಳ ಆಧಾರದ ಮೇಲೆ ವಿಭಜಿಸುವ ವ್ಯವಸ್ಥಿತ ರಾಜಕಾರಣ ನಡೆಯುತ್ತದೆ. ಅನೇಕ ಪಶ್ಚಿಮ ರಾಷ್ಟ್ರಗಳಲ್ಲಿ, ಬಾಂಗ್ಲಾದೇಶ, ಪಾಕಿಸ್ತಾನ, ಶ್ರೀಲಂಕಾದಲ್ಲಿ ಇದು ಸಂಭವಿಸಿದೆ. ದುರದೃಷ್ಟವಶಾತ್ ಇಂದು ಭಾರತವೂ ಇದೇ ದಿಕ್ಕಿನಲ್ಲಿ ಸಾಗುತ್ತಿದೆ.
ಹಿಂದೂ, ಇಸ್ಲಾಂ, ಕ್ರೈಸ್ತ ಅಥವಾ ಸಿಖ್ ಮತಗಳ ಪ್ರಭಾವಳಿಗೆ ಸಿಲುಕಿ ತಮ್ಮ ಮೂಲ ಅಸ್ಮಿತೆಯನ್ನು ಕಳೆದುಕೊಳ್ಳುವ ಶ್ರಮಜೀವಿ ವರ್ಗಗಳು ತಮ್ಮ ಶೋಷಕರನ್ನು ಅಗೋಚರ ಶಕ್ತಿಯಲ್ಲಿ ಕಾಣಲು ಹಪಹಪಿಸುತ್ತವೆ. ಅಥವಾ ಅಧಿಕಾರ ರಾಜಕಾರಣದಲ್ಲಿ ಸೃಷ್ಟಿಯಾಗುವಂತಹ ಮತೀಯ ಚೌಕಟ್ಟುಗಳಲ್ಲಿ ಕಾಣುತ್ತವೆ.
ಅಸ್ಪೃಶ್ಯತೆಯ ಕ್ರೌರ್ಯವನ್ನು ದಿನನಿತ್ಯ ಅನುಭವಿಸುವ ಸಮುದಾಯಗಳೂ ಸಹ, ತಮ್ಮ ಶೋಷಣೆಗೆ ಮೂಲ ಕಾರಣ ಈ ದೇಶದ ಜಾತಿ ಶ್ರೇಷ್ಠತೆಯ ವ್ಯಸನ ಮತ್ತು ವೈದಿಕಶಾಹಿಯ ಸಾಂಸ್ಕೃತಿಕ ಆಧಿಪತ್ಯ ಎನ್ನುವುದನ್ನು ಅರಿಯದೆ, ಅನ್ಯಮತಗಳಲ್ಲಿ, ಅನ್ಯ ಧರ್ಮಗಳಲ್ಲಿ, ಸಾಂಸ್ಕೃತಿಕ ರಾಜಕಾರಣದ ಮೇಲಾಟದಲ್ಲಿ ಕಾಣಲು ಹಂಬಲಿಸುತ್ತವೆ.
ಜಾತಿ ತಾರತಮ್ಯ ಮತ್ತು ದೌರ್ಜನ್ಯಗಳನ್ನು ಪೋಷಿಸುವ ಬಂಡವಾಳಶಾಹಿ ಆರ್ಥಿಕತೆ ಮತ್ತು ಈ ಅರ್ಥವ್ಯವಸ್ಥೆಯನ್ನು ಕಾಪಿಟ್ಟುಕೊಳ್ಳುವ ಮೇಲ್ಜಾತಿಯ ಹಿಡಿತವನ್ನು ಗ್ರಹಿಸಿ, ಇದರ ವಿರುದ್ಧ ಸಿಡಿದೇಳಬೇಕಾದ ಶೋಷಿತ ಸಮುದಾಯಗಳು, ಯಾವುದೋ ಒಂದು ಧಾರ್ಮಿಕ ನಂಬಿಕೆಗಳಿಗೆ ಬಲಿಯಾಗಿ, ಮತೀಯ ಅಸ್ತಿತ್ವಗಳಿಗೆ ಬಲಿಯಾಗಿ, ಮತ್ತೊಂದು ಜನಾಂಗದ ಶ್ರಮಿಕ ವರ್ಗಗಳ ವಿರುದ್ಧವೇ ಹೋರಾಡಲು ಸಜ್ಜಾಗುತ್ತವೆ.
ಇದರಲ್ಲಿ ಪ್ರಬಲ ಮೇಲ್ವರ್ಗಗಳ ರಾಜಕೀಯ ಜಾಣ್ಮೆಯನ್ನು ಕಾಣುವಂತೆಯೇ, ತಳಸಮುದಾಯಗಳ ಅರಿವಿನ ಕೊರತೆಯನ್ನೂ ಕಾಣಬೇಕಿದೆ. ಶೂದ್ರ ಸಮುದಾಯದ ಯುವಪೀಳಿಗೆಯೇ ಹೆಚ್ಚುಹೆಚ್ಚಾಗಿ ಹಿಂದುತ್ವ ರಾಜಕಾರಣದ, ಮುಸ್ಲಿಂ ಮತಾಂಧತೆಯ ಕಾಲಾಳು ಪಡೆಗಳಾಗಿರುವುದನ್ನು ಈ ದೃಷ್ಟಿಯಿಂದಲೇ ನೋಡಬೇಕಾಗಿದೆ.
ಜಾತಿಯ ಸಾಂಸ್ಕೃತಿಕ ನೆಲೆಯಲ್ಲಿ ಅಥವಾ ಆರ್ಥಿಕತೆಯ ನೆಲೆಯಲ್ಲಿ ಗುರುತಿಸಲಾಗದ ಶತ್ರುವನ್ನು ಶೂದ್ರ ಮತ್ತು ದಲಿತ ಸಮುದಾಯಗಳು ಮತೀಯ ನೆಲೆಯಲ್ಲಿ ಗುರುತಿಸಲಾರಂಭಿಸಿವೆ. ಹಾಗಾಗಿಯೇ ಇಸ್ಲಾಂ ಪ್ರಬಲ ಶತ್ರು ಎನಿಸುತ್ತದೆ ಅಥವಾ ಮುಸ್ಲಿಂ ಸಮುದಾಯ ʼ ಅನ್ಯ ʼ ಎನಿಸಿಬಿಡುತ್ತದೆ. ತಮ್ಮ ವಿರುದ್ಧ ನಡೆಯುತ್ತಿರುವ ಶೋಷಣೆಯನ್ನೂ ಗುರುತಿಸಲಾಗದಂತಹ ಸಮೂಹ ಸನ್ನಿಗೆ ಸಮುದಾಯ ಒಳಗಾದಾಗ, ಈ ʼ ಅನ್ಯತೆ ʼಯೇ ಮತೀಯ ರಾಜಕಾರಣಕ್ಕೆ ಬುನಾದಿಯಾಗಿಬಿಡುತ್ತದೆ.
ಇತ್ತೀಚೆಗೆ ಕರ್ನಾಟಕದ ಹಲವೆಡೆಗಳಲ್ಲಿ ಮುಸ್ಲಿಂ ವ್ಯಾಪಾರಿಗಳ ಮೇಲೆ ನಡೆದ ದಾಳಿಗಳನ್ನು ಈ ಹಿನ್ನೆಲೆಯಲ್ಲಿ ನೋಡಬೇಕಿದೆ. ಜೀವನೋಪಾಯದ ಮಾರ್ಗವಾಗಿ, ಲಾಭದಾಹವಿಲ್ಲದ ವ್ಯಾಪಾರವನ್ನು ನಂಬಿ ಬದುಕುವ ಪೆಟ್ಟಿಗೆ ಅಂಗಡಿಯ ಮಸಲ್ಮಾನ, ತಳ್ಳುಗಾಡಿಯಲ್ಲಿ ಕಲ್ಲಂಗಡಿ ಮಾರುವ ನಬೀಸಾಬ್, ತ್ಯಾಜ್ಯ ವಸ್ತುಗಳನ್ನು ಸಂಗ್ರಹಿಸುವವರು, ಜಾತ್ರೆ ಸಂತೆಗಳಲ್ಲಿ ಅಲ್ಪ ಬಂಡವಾಳ ಮತ್ತು ಹೆಚ್ಚು ಸಾಲದ ಹೊರೆಯೊಂದಿಗೆ ವ್ಯಾಪಾರ ಮಾಡುವ ಮುಸ್ಲಿಂ ವರ್ತಕರು, ಧರ್ಮ ರಕ್ಷಣೆಯ ಹೆಸರಿನಲ್ಲಿ ದಾಳಿಗೊಳಗಾಗಿರುವುದನ್ನು ಗಮನಿಸುವಾಗ, ಈ ದಾಳಿಗಳನ್ನು ಪ್ರಚೋದಿಸಿರುವ ರಾಜಕೀಯ ಮತ್ತು ಸಾಂಸ್ಕೃತಿಕ ಶಕ್ತಿಗಳ ಮೂಲ ನೆಲೆಗಳನ್ನೂ ಗಮನಿಸಬೇಕಾಗುತ್ತದೆ.
ಶ್ರಮಿಕ ವರ್ಗಗಳ ನಡುವೆಯೇ ಅಂತರ್ ಕಲಹ ಸೃಷ್ಟಿಸುವ ಮೂಲಕ, ಶೋಷಿತ ಸಮುದಾಯಗಳು ಎಂದಿಗೂ ಐಕ್ಯತೆಯನ್ನು ಸಾಧಿಸದಿರುವಂತೆ ಮಾಡುವ, ಬಂಡವಾಳಶಾಹಿಯ ಹುನ್ನಾರ ಮತ್ತು ಬಂಡವಾಳ ವ್ಯವಸ್ಥೆಯನ್ನು ಪೋಷಿಸುವ ಮೇಲ್ಜಾತಿ-ಮೇಲ್ವರ್ಗಗಳ ರಾಜಕೀಯ ಮೇಲಾಟಗಳನ್ನು ಸೂಕ್ಷ್ಮವಾಗಿ ಗಮನಿಸದೆ ಹೋದರೆ, ಶ್ರಮಿಕ ವರ್ಗಗಳು ತಮ್ಮ ನಡುವೆ ನಿರ್ಮಿಸಲಾಗಿರುವ ಗೋಡೆಗಳನ್ನು ಭೇದಿಸುವುದು ಸಾಧ್ಯವಾಗುವುದೇ ಇಲ್ಲ. ಇಲ್ಲಿ ಶ್ರಮಿಕ ವರ್ಗಗಳ ನಡುವೆ ಇರಲೇಬೇಕಾದ ವರ್ಗಪ್ರಜ್ಞೆಯ ಪ್ರಶ್ನೆ ಮುನ್ನೆಲೆಗೆ ಬರುತ್ತದೆ.
ಶ್ರಮಿಕ ವರ್ಗಗಳಲ್ಲಿ ಈ ವರ್ಗಪ್ರಜ್ಞೆಯ ಕೊರತೆ ಇರುವುದರಿಂದಲೇ ಭಾರತದಲ್ಲಿ ಶೋಷಕ ವರ್ಗಗಳು ಜಾತಿಮತಗಳ ನೆಲೆಯಲ್ಲಿ ಮತ್ತು ಆರ್ಥಿಕ ನೆಲೆಯಲ್ಲಿ ತಮ್ಮ ಶೋಷಕ ವ್ಯವಸ್ಥೆಯನ್ನು ಬಲಪಡಿಸಿಕೊಳ್ಳುತ್ತಿವೆ. ದೇಶದ ಸಂಪತ್ತನ್ನು ವೃದ್ಧಿಸಲು ನೆರವಾಗುವ ಶ್ರಮಶಕ್ತಿಯನ್ನು ಗುರುತಿಸಬೇಕಾದರೆ, ಉತ್ಪಾದಕೀಯ ಶಕ್ತಿಗಳಾದ ಶ್ರಮಿಕರನ್ನು ಪರಸ್ಪರ ಸಂಪರ್ಕಿಸುವ ಶ್ರಮ ಸರಪಳಿಯ ಸಂರಚನೆಯನ್ನೂ ಅರ್ಥಮಾಡಿಕೊಳ್ಳಬೇಕಾಗುತ್ತದೆ.
ಧಾರವಾಡದ ನಬೀಸಾಬ್ ತನ್ನ ಕಲ್ಲಂಗಡಿ ಹಣ್ಣುಗಳ ರಾಶಿ ನೆಲಸಮವಾಗುತ್ತಿರುವುದನ್ನು ಕಂಡು, ವೇದನೆಯಿಂದ “ ನನ್ನನ್ನೂ ಕೊಂದುಬಿಡಿ ” ಎಂದು ಹೇಳುವುದನ್ನು ಒಂದು ರೂಪಕದಂತೆ ನಾವು ನೋಡಬೇಕಿದೆ. ರಸ್ತೆಯಲ್ಲಿ ಚೆಲ್ಲಿದ ಕಲ್ಲಂಗಡಿಯ ತುಣುಕುಗಳಲ್ಲಿ ನಮಗೆ, ಹೊಲದಲ್ಲಿ ದಿನವಿಡೀ ಬೆವರು ಸುರಿಸಿದ ಕೃಷಿ ಕಾರ್ಮಿಕ, ಸಣ್ಣ ರೈತ, ರೈತ ಮಹಿಳೆಯರು, ಹೊಲದಿಂದ ಮಾರುಕಟ್ಟೆಗೆ ಸಾಗಾಣಿಕೆ ಮಾಡುವ ಒಬ್ಬ ಶ್ರಮಿಕ, ಅದನ್ನು ವಾಹನದೊಳಗೆ ತುಂಬಿಸಿ ಮತ್ತೆ ಕೆಳಗಿಳಿಸುವ ಒಬ್ಬ ಕೂಲಿ ಕಾರ್ಮಿಕ, ತಳ್ಳುಗಾಡಿಯ ಗಾಲಿ ಕೀಲುಗಳನ್ನು ತಯಾರಿಸುವ ಒಬ್ಬ ಕುಶಲಕರ್ಮಿ ಮತ್ತು ಈ ವ್ಯಾಪಾರವನ್ನೇ ನಂಬಿ ಬದುಕುವ ಒಂದು ಬಡ ಕುಟುಂಬ, ಇವೆಲ್ಲವೂ ಕಾಣದೆ ಹೋದರೆ ನಾವು ನಾಗರಿಕ ಪ್ರಜ್ಞೆಯನ್ನು ಕಳೆದುಕೊಂಡಿದ್ದೇವೆ ಎಂದೇ ಅರ್ಥ.
ಹಾಗೆಯೇ ಈ ಶ್ರಮಸರಪಳಿಯ ಕೊಂಡಿಗಳನ್ನು ಅರ್ಥಮಾಡಿಕೊಳ್ಳದೆ ಹೋದರೆ ನಮ್ಮಲ್ಲಿ ಸಾಮಾಜಿಕ ವರ್ಗಪ್ರಜ್ಞೆ ನಶಿಸಿದೇ ಎಂದೇ ಅರ್ಥ.
ವರ್ಗಪ್ರಜ್ಞೆ ಜಾಗೃತವಾಗಿರುವ ಸಮಾಜದಲ್ಲಿ ನಬೀಸಾಬ್ ಏಕಾಂಗಿಯಾಗುತ್ತಿರಲಿಲ್ಲ. ಅವರಂತೆಯೇ ದುಡಿದು ಬದುಕುವ ನೂರಾರು ಶ್ರಮಿಕರು ತಮ್ಮ ಜಾತಿ ಮತಗಳ ಅಸ್ಮಿತೆಗಳನ್ನು ಬದಿಗೊತ್ತಿ, ಶ್ರಮಸರಪಳಿಯ ಕೊಂಡಿಗಳನ್ನು ಮತ್ತಷ್ಟು ಬಲಪಡಿಸುತ್ತಿದ್ದರು.
ಇಂದು ತನ್ನ ಧಾರ್ಮಿಕ ನಂಬಿಕೆಗಳಿಗಾಗಿ ದಾಳಿಗೊಳಗಾದ ನಬೀಸಾಬ್ನಂತೆಯೇ ಮುಂದೊಂದು ದಿನ ಮತ್ತೋರ್ವ ವ್ಯಾಪಾರಿ ತಾನು ಹುಟ್ಟಿದ ಜಾತಿಯ ಕಾರಣಕ್ಕಾಗಿ ಹಲ್ಲೆಗೊಳಗಾಗಬಹುದು. ರೇಷ್ಮೆ ಗೂಡುಗಳ ಮಾರುಕಟ್ಟೆಯಲ್ಲೂ ಧಾರ್ಮಿಕ ಅಸ್ಮಿತೆಗಳನ್ನು ಹುಡುಕುತ್ತಿರುವ ಧರ್ಮಾಂಧರು ಒಂದು ತುಂಡು ರೇಷ್ಮೆ ವಸ್ತ್ರದ ಹಿಂದಿರುವ ಶ್ರಮಸರಪಳಿಯನ್ನು ಗಮನಿಸಬೇಕು.
ಹಿಪ್ಪು ನೇರಳೆ ಬೆಳೆಯುವ ರೈತ ಯಾವುದೋ ಶೂದ್ರ ಸಮುದಾಯಕ್ಕೆ ಸೇರಿದವನಾಗಿರುತ್ತಾನೆ. ಮೇಲ್ಜಾತಿಯವರ ಒಡೆತನದಲ್ಲಿ ನಡೆಯುವ ಬೇಸಾಯ ಪ್ರಕ್ರಿಯೆಯಲ್ಲಿ ದಲಿತರ ಶ್ರಮವೂ ಬೆರೆತಿರುತ್ತದೆ. ಈ ಸೊಪ್ಪುಗಳನ್ನು ಉಣಬಡಿಸುತ್ತಲೇ ಮೊಟ್ಟೆಗಳು ಚಿಟ್ಟೆಗಳಾಗಿ ತಮ್ಮ ಸುತ್ತಲೂ ಗೂಡು ಕಟ್ಟಿಕೊಳ್ಳುತ್ತವೆ.
ಗೂಡು ಕಟ್ಟುವಂತೆ ಮಾಡುವ ಸಾಕಾಣಿಕೆ ಶ್ರಮದಲ್ಲಿ ಹಲವು ಜಾತಿ ಸಮುದಾಯಗಳ ಕೊಡುಗೆ ಇರುತ್ತದೆ. ಈ ಗೂಡುಗಳಿಂದ ತೆಗೆಯಲಾಗುವ ನೂಲಿನಲ್ಲಿ ಮುಸಲ್ಮಾನನೊಬ್ಬನ ಬೆವರು ಅಡಗಿರುತ್ತದೆ. ಈ ಬೆವರಿನ ಫಲವನ್ನೇ ನೇಕಾರನೊಬ್ಬನು ವಸ್ತ್ರವನ್ನಾಗಿ ಪರಿವರ್ತಿಸುತ್ತಾನೆ. ಈ ವಸ್ತ್ರದ ಉತ್ಪಾದನೆಯ ಹಾದಿಯಲ್ಲಿ ರೇಷ್ಮೆ ಗೂಡನ್ನು ನಂಬಿ ಬದುಕುವ ರೈತ, ನೂಲನ್ನು ನಂಬಿ ಬದುಕುವ ಮುಸಲ್ಮಾನ ಮತ್ತು ವಸ್ತ್ರ ನೇಯುವ ನೇಕಾರ ತಮ್ಮ ಜಾತಿ ಸಮುದಾಯದ ಅಸ್ಮಿತೆಗಳನ್ನು ಮರೆತು ಶ್ರಮಿಸುತ್ತಾರೆ.
ಈ ವಸ್ತ್ರ ಮಾರುಕಟ್ಟೆಗೆ ಬಂದ ಕೂಡಲೇ ಅದಕ್ಕೆ ಪಾವಿತ್ರ್ಯತೆ, ಜಾತಿ ಶ್ರೇಷ್ಠತೆಯ ಪಾರಮ್ಯ ಮತ್ತು ಮಾರುಕಟ್ಟೆ ಮೌಲ್ಯ ಅಂಟಿಕೊಳ್ಳುತ್ತದೆ. ಇಲ್ಲಿಗೆ ಶ್ರಮಿಕರ ಶ್ರಮ ಸರಪಳಿ ಅಂತ್ಯಗೊಂಡು, ಇಡೀ ಶ್ರಮಿಕ ಸಮುದಾಯ ಈ ಉತ್ಪನ್ನದಿಂದ ಹೊರತಾಗಿಬಿಡುತ್ತದೆ. ರೇಷ್ಮೆ ಗೂಡಿನ ವಹಿವಾಟಿನ ಮೇಲೆ ದಾಳಿ ನಡೆಯುವಾಗ, ಈ ಶ್ರಮ ಸರಪಳಿಯ ವಾರಸುದಾರರು ಒಂದಾಗಿದ್ದರೆ, ಇಂತಹ ದಾಳಿಗಳ ವಿರುದ್ಧ ದನಿ ಎತ್ತಬಹುದಲ್ಲವೇ ?
ಭಾರತದ ಶ್ರೇಣೀಕೃತ ಜಾತಿ ವ್ಯವಸ್ಥೆ, ಬಂಡವಾಳಶಾಹಿಯೊಡನೆ ಕೈಜೋಡಿಸಿ ಶ್ರಮಿಕ ಸಮುದಾಯಗಳ ನಡುವೆ ಶಾಶ್ವತವಾದ ಗೋಡೆಗಳನ್ನು ಕಟ್ಟುತ್ತಿರುವ ಈ ಸಂದರ್ಭದಲ್ಲಿ ಇಂತಹ ಒಂದು ವರ್ಗಪ್ರಜ್ಞೆ ಅನಿವಾರ್ಯವಾಗಿದೆ. ಬಹುಶಃ ಈ ವರ್ಗಪ್ರಜ್ಞೆ ಜಾಗೃತವಾಗಿದ್ದಲ್ಲಿ ಇಂದು ಜಾತ್ರೆಗಳಲ್ಲಿ, ಸಂತೆಗಳಲ್ಲಿ, ದೇವಾಲಯದ ಆವರಣಗಳಲ್ಲಿ ಸಣ್ಣಪುಟ್ಟ ವ್ಯಾಪಾರಿಗಳು ಮತಾಂಧರಿಂದ ದಾಳಿಗೊಳಗಾಗುತ್ತಿರಲಿಲ್ಲ.
ಮತೀಯ ದ್ವೇಷ ಮತ್ತು ಧಾರ್ಮಿಕ ಅಸ್ಮಿತೆಗಳಿಗೆ ಬಲಿಯಾಗಿ ಇಂತಹ ದಾಳಿಗಳನ್ನು ಸಂಭ್ರಮಿಸುವ ಮೂಲಕ ನಮ್ಮ ಸಮಾಜ ತನ್ನ ಪ್ರಜ್ಞಾಶೂನ್ಯತೆಯನ್ನು ಪ್ರದರ್ಶಿಸಿದೆ. ಆದರೆ ಶ್ರಮಿಕ ವರ್ಗ ಈ ಪ್ರಜ್ಞಾಶೂನ್ಯತೆಯ ಸಮೂಹ ಸನ್ನಿಗೊಳಗಾಗದೆ ತನ್ನ ಮೂಲ ವರ್ಗ ಅಸ್ಮಿತೆಯೊಂದಿಗೆ ಗುರುತಿಸಿಕೊಳ್ಳುವುದರೊಂದಿಗೆ ಶ್ರಮಜೀವಿಗಳ ಶೋಷಣೆಯ ಮೂಲವಾದ ಶ್ರೇಣೀಕೃತ ಜಾತಿ ವ್ಯವಸ್ಥೆ ಮತ್ತು ಶೋಷಕ ಬಂಡವಾಳಶಾಹಿಯ ವಿರುದ್ಧ ಐಕ್ಯತೆಯಿಂದ ಹೋರಾಡುವುದು ಇಂದಿನ ಅನಿವಾರ್ಯತೆಯಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ರಸ್ತೆ ವಿಸ್ತೀರ್ಣ ವಿರೋಧಿಸಿ ಎಸ್ಓಜಿ ಕಾಲೋನಿ ನಿವಾಸಿಗಳ ಪ್ರತಿಭಟನೆ
ದಾವಣಗೆರೆ: ಎಸ್ಓಜಿ ಕಾಲೊನಿಯ ಮುಖ್ಯ ರಸ್ತೆಯ ವಿಸ್ತೀರ್ಣ ಕಡಿತಗೊಳಿಸಿ ನಿರಾಶ್ರಿತರಿಗೆ ನಿವೇಶನ ಹಂಚಿಕೆ ಮಾಡಿರುವ ಆದೇಶವನ್ನು ಕೂಡಲೇ ರದ್ದುಪಡಿಸುವುದರೊಂದಿಗೆ, ನೀರಿನ ಕಂದಾಯ ಪಾವತಿಗೆ 5 ವರ್ಷದ ಬಾಕಿಯನ್ನು ಮಾತ್ರ ಪರಿಗಣಿಸಬೇಕು ಎಂದು ಒತ್ತಾಯಿಸಿ ಎಸ್ಒಜಿ ಕಾಲೊನಿಯ ನಿವಾಸಿಗಳು ಮಹಾನಗರ ಪಾಲಿಕೆ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.
ಜಯದೇವ ವೃತ್ತದಲ್ಲಿ ಸೇರಿದ ಎಸ್ಒಜಿ ಕಾಲೊನಿಯ ನಿವಾಸಿಗಳು ಇಲ್ಲಿಂದಲೇ ಮೆರವಣಿಗೆ ಹೊರಟು ಮಹಾನಗರ ಪಾಲಿಕೆಗೆ ತೆರಳಿ ಮನವಿ ಸಲ್ಲಿಸಿದರು.
ನಗರದ ರವೀಂದ್ರನಾಥ ಬಡಾವಣೆಯಲ್ಲಿ ಇತ್ತೀಚೆಗೆ ತೆರವುಗೊಳಿಸಿದ 36 ಕುಟುಂಬಗಳಿಗೆ ನಿರಾಶ್ರಿತರ ಕೇಂದ್ರದಲ್ಲಿ ಆಶ್ರಯ ಕಲ್ಪಿಸಲಾಗಿತ್ತು. ಈ ಕುಟುಂಬಗಳಿಗೆ ಇತ್ತೀಚೆಗೆ ಎಸ್ಒಜಿ ಕಾಲೊನಿಯ ಮುಖ್ಯ ರಸ್ತೆ ಬದಿಯಲ್ಲಿ ನಿವೇಶನ ಒದಗಿಸಲಾಗಿದೆ. ಮುಖ್ಯರಸ್ತೆಯ ವಿಸ್ತೀರ್ಣವನ್ನು ಕಡಿತಗೊಳಿಸಿ ನಿರಾಶ್ರಿತರಿಗೆ ನಿವೇಶನ ಸೌಲಭ್ಯ ಕಲ್ಪಿಸಿದ್ದು ಖಂಡನೀಯ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.
ವಾಹನ ದಟ್ಟಣೆ ಸಾಧ್ಯತೆಯನ್ನು ಗಮನಿಸಿ 40 ಅಡಿ ಮುಖ್ಯ ರಸ್ತೆಯನ್ನು ನಿರ್ಮಿಸಲಾಗಿತ್ತು. ಇದೇ ರಸ್ತೆಯ ಬದಿಯಲ್ಲಿ ಒಳಚರಂಡಿ, ಗ್ಯಾಸ್ ಕೊಳವೆ ಮಾರ್ಗ ಹಾಗೂ ಕುಡಿಯುವ ನೀರಿನ ಪೈಪ್ಲೈನ್ ಅಳವಡಿಸಲಾಗಿದೆ. ರಸ್ತೆ ವಿಸ್ತೀರ್ಣವನ್ನು 25 ಅಡಿಗೆ ಕಡಿತಗೊಳಿಸಿ ಪ್ರತಿ ನಿರಾಶ್ರಿತ ಕುಟುಂಬಕ್ಕೆ 15X40 ಅಡಿಯ ನಿವೇಶನ ಹಂಚಿಕೆ ಮಾಡಲಾಗಿದೆ. ಇದರಿಂದ ಕಾಲೊನಿಯ ನಿವಾಸಿಗಳಿಗೆ ತೊಂದರೆ ಆಗಲಿದೆ ಎಂದು ಎಸ್ಓಜಿ ಕಾಲೊನಿ ನಾಗರಿಕ ಹಿತರಕ್ಷಣಾ ಸಮಿತಿ ಅಧ್ಯಕ್ಷ ಡಿ. ಕಲ್ಲೇಶಪ್ಪ ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲಾಧಿಕಾರಿಯಾಗಿದ್ದ ಕೆ.ಶಿವರಾಂ ಅವರು ಎಸ್ಒಜಿ ಕಾಲೊನಿ ನಿರ್ಮಿಸಿದ್ದರು. ಶಾಸಕರಾಗಿದ್ದ ಶಾಮನೂರು ಶಿವಶಂಕರಪ್ಪ ಅವರು ನೀರಿನ ಕಂದಾಯಕ್ಕೆ ವಿನಾಯಿತಿ ನೀಡಿದ್ದರು. ಆದರೆ, ಇತ್ತೀಚೆಗೆ ಮಹಾನಗರ ಪಾಲಿಕೆ 25 ವರ್ಷಗಳ ನೀರಿನ ಕಂದಾಯ ಪಾವತಿಸುವಂತೆ ನೋಟಿಸ್ ನೀಡಿದೆ. ಇದು ನಾಗರಿಕರಲ್ಲಿ ಆತಂಕ ಮೂಡಿಸಿದೆ ಎಂದು ಪ್ರತಿಭಟನಕಾರರು ಅಸಮಾಧಾನ ಹೊರಹಾಕಿದರು.

ಅಂತರಂಗ
ಭೀಮಾ ಕೋರೆಗಾಂವ ; ಮಹರ್ ಸೈನಿಕರ ವೀರಗಾಥೆ
~ ಡಾ. ಸುಜಾತಾ ಚಲವಾದಿ
ಭಾರತದ ಇತಿಹಾಸದಲ್ಲಿ ಅನೇಕ ಕ್ರೂರ ವ್ಯಂಗ್ಯಗಳಿವೆ. ಅವುಗಳಲ್ಲಿ ಪೇಶ್ವಾಶಾಹಿ ಆಡಳಿತವು ಒಂದು. ಅವರ ಆಡಳಿತ ಸಂದರ್ಭದಲ್ಲಿ ಅಸ್ಪೃಶ್ಯರು ತಮ್ಮ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಬದುಕುವ ಸ್ಥಿತಿಯಿತ್ತು. ಜಾತಿ ವ್ಯವಸ್ಥೆ ವಿಜೃಂಭಿಸುತ್ತಿದ್ದ ಕಾಲವದು.
ದೌರ್ಜನ್ಯ, ಅನ್ಯಾಯಕ್ಕೆ ಒಳಗಾಗಿ ಸದಾ ನೋವಿನ ಬದುಕು ಅಸ್ಪೃಶ್ಯರದ್ದಾಗಿತ್ತು. ಕಿತ್ತುತಿನ್ನುವ ಬಡತನ, ಹಸಿವು, ದಾರಿದ್ರö್ಯ, ಅಶಿಕ್ಷಿತರಾದ ಅಸ್ಪಶ್ಯರು ಅನ್ಯಾಯದ ವಿರುದ್ಧ ಹೋರಾಟ ಮಾಡುವುದು ಕನಸಿನ ಮಾತಾಗಿತ್ತು. ಇವರ ಬಲಹೀನತೆಯನ್ನು ಬಳಸಿಕೊಂಡು ‘ಪ್ರಾಣಿಗಿಂತ ಕೀಳಾಗಿ’ ನಡೆಸಿಕೊಳ್ಳುತ್ತಿದ್ದ ಪೇಶ್ವಾ ಆಡಳಿತವು ಶೂದ್ರರ, ನಿಮ್ನರ ಮೇಲೆ ತಮ್ಮ ಅಟ್ಟಹಾಸವನ್ನು ಮೆರೆಯುತ್ತಿದ್ದರು.
ಅನ್ಯಾಯಕ್ಕೆ ಒಳಗಾದ ಕೆಳಜಾತಿಯ ಮಹಾರರು, ಮಾಂಗರು, ಚಮ್ಮಾರರು ಮತ್ತು ಮಹಿಳೆಯರು ತತ್ತರಿಸಿ ಹೋಗಿದ್ದರು. ಮಹಾರಾಷ್ಟçದ ಪೇಶ್ವಾಶಾಹಿ ಕಾಲಘಟ್ಟದಲ್ಲಿ ನಡೆದ ಭೀಮಾ ಕೋರೆಗಾಂವ ಚಳವಳಿಯನ್ನು ಬರಹದ ರೂಪದಲ್ಲಿ ಬಾಬಾಸಾಹೇಬ ಅಂಬೇಡ್ಕರ್ ನಮ್ಮ ಮುಂದೆ ಇರಿಸಿದ್ದಾರೆ.
1ನೇ ಜನವರಿ 1818ರಲ್ಲಿ ಅಂದರೆ ಇಂದಿಗೆ 207 ವರ್ಷಗಳ ಹಿಂದೆ 28,000 ಸಾವಿರ ಸಂಖ್ಯೆಯ ಪೇಶ್ವಾಸೈನ್ಯದ ಎದುರು ಐದುನೂರು ಮಹಾರ ಜನಾಂಗದವರು ಹೋರಾಡಿ ವಿಜಯ ಸಾಧಿಸಿದ ದಿನ ಕೋರೆಗಾಂವ್ ಯುದ್ಧ ‘ನ್ಯಾಯದ ಯುದ್ಧ’, ಇಡೀ ಪರಿಶಿಷ್ಟ ಜಾತಿಯವರಿಗೆ ಸ್ವಾಭಿಮಾನದ ಸಂಕೇತವಾಗಿ ಪರಿಣಮಿಸಿದೆ.
ಈ ದಿನವನ್ನು ಯಾವ ಮಹಾರರೂ ಮರೆಯುವ ಹಾಗಿಲ್ಲ. ಬಾಬಾಸಾಹೇಬರು ಈ ದಿನದ ಸ್ಮರಣೆಯನ್ನು “ದಲಿತರ ಪರಾಕ್ರಮ ದಿನ”ವೆಂದು ತಿಳಿದು ಕೋರೆಗಾಂವನಲ್ಲಿ ನಿರ್ಮಿಸಿದ ವಿಜಯಸ್ತಂಭ ಸ್ಮಾರಕಕ್ಕೆ ವಂದಿಸಲು ಪ್ರತೀ ವರ್ಷ ಜನವರಿ 1 ರಂದು ತಪ್ಪದೇ ಹೋಗಿ ಬರುತ್ತಿದ್ದರು. ಜಾತಿಪದ್ಧತಿಯೇ ಪ್ರಧಾನವಾದ ಕಾಲದಲ್ಲಿ ಅಸ್ಪಶ್ಯರ ಸ್ಥಿತಿ ತುಂಬಾ ಹದಗೆಟ್ಟು ಹೋಗಿತ್ತು. ಮೇಲು-ಕೀಳು ಎಂಬ ಭಾವನೆ ಏರುಮುಖದಲ್ಲಿದ್ದ ಕಾಲ.
ಮನುಸ್ಮೃತಿಯನ್ನು ಚಾಚೂ ತಪ್ಪದೇ ಮುನ್ನಡೆಸಿಕೊಂಡು ಬರುವ ಮೇಲ್ವರ್ಗದವರು ಅಸ್ಪೃ್ಪಶ್ಯರನ್ನು ಕಂಡರೆ ಅನೇಕ ಬಗೆಯ ಶಿಕ್ಷೆಗೆ ಒಳಗು ಮಾಡುತ್ತಿದ್ದರು. ಅಸ್ಪೃಶ್ಯರನ್ನು ಕಂಡರೆ ಮೈಲಿಗೆಯಾಗುತ್ತದೆ ಎನ್ನುವ ಮನಸ್ಥಿತಿ ಅವರದ್ದು, ಅಸ್ಪೃಶ್ಯ ರಸ್ತೆಗೆ ಇಳಿಯಕೂಡದು, ಒಳ್ಳೆ ಬಟ್ಟೆ ಹಾಕಿಕೊಳ್ಳುವ ಹಾಗಿಲ್ಲ, ಒಳ್ಳೆಯ ಆಹಾರ ಸೇವನೆಯಂತೂ ಕನಸಿನ ಮಾತಾಗಿತ್ತು. ಊರ ಪ್ರವೇಶಕ್ಕೆ ಸಮಯ ನಿಗದಿ ಮಾಡಿದ್ದರು.
ಸೂರ್ಯೋದಯ, ಸೂರ್ಯಾಸ್ತದ ಸಂದರ್ಭದಲ್ಲಿ ಅಸ್ಪೃಶ್ಯ ವ್ಯಕ್ತಿ ಊರಲ್ಲಿ ಬರುವಂತಿರಲಿಲ್ಲ. ಸೂರ್ಯ ನೆತ್ತಿಯ ಮೇಲಿದ್ದಾಗ ಮಾತ್ರ ಊರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಬೀದಿಯಲ್ಲಿ ಹೋಗಬೇಕಾದರೆ ಕೊರಳಿಗೆ ಮಣ್ಣಿನ ಸಣ್ಣ ಕುಡಿಕೆಯನ್ನು ಹಾಕಿಕೊಂಡು ಹೋಗಬೇಕು, ಉಗುಳುವ ಸಂದರ್ಭ ಬಂದರೆ, ಅದೇ ಕುಡಿಕೆಯಲ್ಲಿಯೇ ಉಗುಳಿಕೊಳ್ಳಬೇಕು. ಕಾರಣ ರಸ್ತೆಯಲ್ಲಿ ಅಸ್ಪೃಶ್ಯರು ಉಗುಳಿದರೆ ಅವನ ಹೇಸಿಗೆಯನ್ನು ಸವರ್ಣೀಯರು ತುಳಿಯಬಾರದು.
ತುಳಿದರೆ ಮೈಲಿಗೆಯಾಗುತ್ತಿತ್ತು. ರಸ್ತೆಯಲ್ಲಿ ನಡೆಯುವಾಗ ಆತನ ನೆರಳು ಅವನ ಕಾಲಲ್ಲಿಯೇ ಉಳಿಯುವ ಹಾಗೇ ಮಧ್ಯಾಹ್ನದ ನೆತ್ತಿ ಸುಡುವ ಬಿಸಿಲಿನಲ್ಲಿ ಮಾತ್ರ ಊರಲ್ಲಿ ಬರಬೇಕು. ನಡೆದುಕೊಂಡು ಹೋಗುವಾಗ ಹೆಜ್ಜೆ ಗುರುತುಗಳು ಕಾಣದಿರಲಿ ಎಂದು ಬೆನ್ನಿಗೆ ಮುಳ್ಳಿನ ಪೊರಕೆಯನ್ನು ಕಟ್ಟಿಕೊಂಡು ಸಾಗಬೇಕಾದ ಸ್ಥಿತಿ ಅವರದಾಗಿತ್ತು. ಹಾಗೇ ಅಸ್ಪೃಶ್ಯನೊಬ್ಬ ಬರುವುದನ್ನು ‘ಸಂಭೋಳಿ ಸಂಭೋಳಿ ಮಾಯ್ ಬಾಪ್ ಹೊಲೆಯ ಬರುತ್ತಿದ್ದೇನೆ’ ಅಂತಾ ಕೂಗಿ ಹೇಳಬೇಕು. ಇಲ್ಲ, ಕೈಯಲ್ಲಿ ಗೆಜ್ಜೆಕಟ್ಟಿದ ಕೋಲನ್ನು ಹಿಡಿದುಕೊಂಡು ನೆಲಕ್ಕೆ ಕುಕ್ಕಿಸಿಕೊಂಡು ಸದ್ದು ಮಾಡುತ್ತ ಹೋಗಬೇಕು.
ಇದಲ್ಲದೆ ಅಸ್ಪೃಶ್ಯ ಊರ ಪ್ರವೇಶ ಮಾಡಿದಾಗ ಯಾರಾದರೂ ಎದುರು ಬಂದರೆ ಸುಡುವ ಬಿಸಿಲಲ್ಲಿ ಓಡಿ ಹೋಗಿ ಭೂಮಿಯನ್ನು ಅಪ್ಪಿಕೊಳ್ಳಬೇಕು. ಸವರ್ಣೀಯರಿಗೆ ಅವನ ನೆರಳೂ ಸ್ಪರ್ಶ ಮಾಡುವಂಗಿರಲಿಲ್ಲ. ಇಂತಹ ಅಮಾನವೀಯ ನಿಯಮಗಳನ್ನು ಹೊರಡಿಸಿದ ಕಾಲಘಟ್ಟವದು. ಇಷ್ಟೆಲ್ಲಾ ನಿಯಮಗಳನ್ನು ಅಸ್ಪಶ್ಯರ ಮೇಲೆ ಹೇರಿದರೂ ಕೂಡಾ ಮಹಾರ್ ಸೈನಿಕರು ತಮ್ಮ ಪ್ರಾಣವನ್ನು ಲೆಕ್ಕಿಸದೆ ಮೊಗಲರ ಬೃಹತ್ ಸೈನ್ಯದ ವಿರುದ್ಧ ಹೋರಾಡಿ ಪೇಶ್ವೆಗಳ ಪರವಾಗಿ ಯುದ್ಧಕ್ಕೆ ಸನ್ನದ್ಧರಾಗಿದ್ದರು. ಮಹಾರ್ ಸೈನಿಕರ ಶೌರ್ಯದಿಂದಲೇ ಪೇಶ್ವೆಗಳ ಆಡಳಿತ ಸುಗಮವಾಗಿ ನಡೆಯುತ್ತಿತ್ತು. ಆದರೆ ಪೇಶ್ವಗಳು ಮತ್ತು ಸವರ್ಣೀಯರು ಮಹಾರ್ಸೈನಿಕರನ್ನು ತುಚ್ಛವಾಗಿ ನಡೆಸಿಕೊಳ್ಳುತ್ತಿದ್ದರು.
1758 ರಲ್ಲಿ ಬ್ರಿಟಿಷರು ಈಸ್ಟ್ ಇಂಡಿಯಾ ಕಂಪನಿಯನ್ನು ಸ್ಥಾಪಿಸಿದ ನಂತರ ಮಹಾರ್ ಜನರನ್ನು ಸೈನಿಕರಾಗಿ ನೇಮಕ ಮಾಡಿಕೊಳ್ಳಲು ಪ್ರಾರಂಭಿಸಿದರು. ಭಾರತೀಯ ಮಹಾರ್ ಸೈನಿಕರಿಗೆ ಶಿಕ್ಷಣದ ಅವಕಾಶವನ್ನು ಮಾಡಿಕೊಟ್ಟಿದ್ದರ ಪರಿಣಾಮ ಸ್ವಲ್ಪ ಮಟ್ಟಿಗೆ ತಿಳಿವಳಿಕೆ ಮೂಡಲು ಸಹಾಯವಾಯಿತು. ತಮ್ಮ ಹಕ್ಕು-ಬಾಧ್ಯತೆಗಳನ್ನು ತಿಳಿಯುವಂತಾಯಿತು. ಬ್ರಿಟಿಷರಲ್ಲಿ ಇರದ ಜಾತಿವ್ಯವಸ್ಥೆ ನಮ್ಮ ದೇಶದಲ್ಲಿ ಕಂಡ ಮಹಾರ್ ಸೈನಿಕರು ಬ್ರಿಟಿಷರಿಗೆ ತಮ್ಮ ಬೆಂಬಲವನ್ನು ನೀಡುವಂತಾಯಿತು. ಅವಮಾನ, ಅನ್ಯಾಯ, ದೌರ್ಜನ್ಯಕ್ಕೆ ಒಳಗಾದ ಮಹಾರ್ ಜನಾಂಗದವರು, ಈ ಎಲ್ಲದರಿಂದ ಮುಕ್ತಿ ಕಾಣಲು ಬ್ರಿಟಿಷರ ಪರವಾಗಿ ಯುದ್ಧಗಳಲ್ಲಿ ಹೋರಾಡಲು ಪ್ರಾರಂಭಿಸಿದರು.
ಎರಡನೆಯ ಬಾಜೀರಾವ್ ಪೇಶ್ವೆಯ ರಾಜ್ಯಾಡಳಿತವಿದ್ದ ಸಂದರ್ಭದಲ್ಲಿ 31 ನೇ ಡಿಸೆಂಬರ್ 1817 ರ ರಾತ್ರಿ ಬ್ರಿಟಿಷರ ಸೇನಾಪತಿ ಕ್ಯಾಪ್ಟನ್ ಫ್ರಾನ್ಸಿಸ್ ಸ್ಟಂಡನ್ ಮುಂದಾಳತ್ವದಲ್ಲಿ ಸೇನೆ ಪೇಶ್ವೆಗಳ ಮೇಲೆ ದಾಳಿ ಮಾಡಲು ಸಿದ್ಧಗೊಂಡಿತು. ಇದನ್ನು ತಿಳಿದ ಮಹಾರ್ ಬೆಟಾಲಿಯನ್ನಿನ ನಾಯಕ ಸಿದ್ಧನಾಕ ಮಾರುವೇಷದಲ್ಲಿ ಪೇಶ್ವೆಯನ್ನು ಕಾಣುತ್ತಾನೆ. ಆಗ ಪೇಶ್ವೆ ಮಹಾರ್ ಬೆಟಾಲಿಯನ್ನಿನ ನಾಯಕ ಸಿದ್ಧನಾಕನನ್ನು ಒಳಗೆ ಬಿಟ್ಟವನನ್ನು ಕೊಲ್ಲಿಸುತ್ತಾನೆ. ಇಂಗ್ಲಿಷರು ನಿಮ್ಮ ಮೇಲೆ ಯುದ್ಧ ಮಾಡುವರಿದ್ದಾರೆ, ನೀವು ನಮ್ಮ ಹಕ್ಕುಗಳನ್ನು ನಮಗೆ ನೀಡುವುದಾದರೆ ನಿಮ್ಮ ಪರವಾಗಿ ಅವರ ವಿರುದ್ಧ ನಾವು ಹೋರಾಡುತ್ತೇವೆ ಎನ್ನುತ್ತಾನೆ. “ನಿಮ್ಮ ಹಕ್ಕುಗಳು ಯಾವವು? ನೀನು ಇನ್ನೊಂದು ಘಳಿಗೆ ಇಲ್ಲಿ ನಿಂತರೆ ನಿನ್ನ ಶಿರಚ್ಛೇದನ ಮಾಡುತ್ತೇನೆ” ಎಂದು ಗದರುತ್ತಾನೆ. ಸಿದ್ಧನಾಕ ಮರಳಿ ಬಂದು ಅಲ್ಲಿ ನಡೆದ ಎಲ್ಲ ವಿವರ ಸಂಗಾತಿಗಳಿಗೆ ನೀಡುತ್ತಾನೆ. ಅಂತಿಮವಾಗಿ ಇಂಗ್ಲಿಷರ ಪರವಾಗಿ ಮಹಾರ್ ಬೆಟಾಲಿಯನ್ ಹೋರಾಡಲು ಸಿದ್ಧವಾಗುತ್ತದೆ. ಪೇಶ್ವೆಗಳ ಸೈನ್ಯ ಕೋರೆಗಾಂವ್ ಪ್ರದೇಶದ ಭೀಮಾನದಿಯ ಬಲದಂಡೆಯ ಮೇಲೆ ಯುದ್ಧಕ್ಕೆ ಸಜ್ಜಾಗಿ ಸುತ್ತುವರೆದು ನಿಂತುಕೊಂಡಿತು. ಮಹಾರ್ ರೆಜಿಮೆಂಟ್ ಸೈನ್ಯ ಬ್ರಿಟಿಷರ ಪರವಾಗಿ ಯುದ್ಧಕ್ಕೆ ಸಜ್ಜಾಗಿದ್ದರು.
ಪೇಶ್ವೆಗಳ ಸೇನೆಯು 25,000 ಕುದುರೆ ಸವಾರರು ಮತ್ತು 3,000 ಕ್ಕಿಂತಲೂ ಹೆಚ್ಚು ಸಂಖ್ಯೆಯಲ್ಲಿದ್ದ ಯೋಧರಿಂದ ತುಂಬಿ ತುಳುಕುತ್ತಿತ್ತು. ಎರಡೂ ಸೇನೆಗಳ ನಡುವೆ ಘನಘೋರ ಯುದ್ಧ ಪ್ರಾರಂಭವಾಗುತ್ತದೆ. ಬೃಹತ್ ಸೇನೆಯ ವಿರುದ್ಧ ಬ್ರಿಟಿಷ್ ಸೇನಾಪತಿ ಕ್ಯಾಪ್ಟನ್ ಪ್ರಾನ್ಸಿಸ್ ಸ್ಟಂಡನ್ ತಾನು ಸೋಲುತ್ತೇನೆ ಎಂದುಕೊAಡು ನಿರಾಶೆಯನ್ನು ತಳೆದಿದ್ದ. ಆದರೂ ಎದುರಾಳಿಯ ಜೊತೆ ಯುದ್ಧದಲ್ಲಿ ಮುನ್ನುಗ್ಗುವುದು ಆತನ ವಿಚಾರವಾಗಿತ್ತು. “ಮಹಾರ್ ಸೈನಿಕರು ವೀರಾವೇಶದಿಂದ ಹೋರಾಡಿ ಪೇಶ್ವೆಗಳು ಪಲಾಯನ ಗೈಯ್ಯಲು ಕಾರಣರಾದರು. ಈ ಯುದ್ಧದಲ್ಲಿ ಎರಡನೆಯ ಬಾಜಿರಾವ್ ಪೇಶ್ವೆಯು ಪಲಾಯನ ಮಾಡುವುದರಲ್ಲಿ ಮೊದಲಿಗ”ನೆಂದು ಬಾಬಾಸಾಹೇಬರು ತಮ್ಮ ಬರಹದಲ್ಲಿ ದಾಖಲಿಸಿದ್ದಾರೆ.
ಬೆಳಿಗ್ಗೆ ಆರು ಗಂಟೆಗೆ ಪ್ರಾರಂಭವಾದ ಯುದ್ಧ ರಾತ್ರಿ ಆರು ಗಂಟೆಗೆ ಮುಕ್ತಾಯಗೊಳ್ಳುತ್ತದೆ. ಸಂಖ್ಯೆಯಲ್ಲಿ ಅಲ್ಪವಾಗಿದ್ದರೂ ಅತ್ಯಂತ ಕೆಚ್ಚಿನಿಂದ ಕಲಿತನ ಪ್ರದರ್ಶಿಸಿದ ಮಹಾರ್ ಯೋಧರು, ತಮ್ಮ ಮೇಲೆ ಅಮಾನವೀಯವಾದ ಅಸ್ಪೃಶ್ಯತೆಯನ್ನು ಹೇರಿದ್ದ ಪೇಶ್ವೆ ಆಡಳಿತವನ್ನು ಯುದ್ಧದಲ್ಲಿ ಮಣ್ಣು ಮುಕ್ಕಿಸಿದರು. ಮಹಾರ್ ಸೈನಿಕರ ಅಭೂತಪೂರ್ವ ಕಲಿತನದ ಕಾರಣದಿಂದಲೇ ಬ್ರಿಟಿಷರು ಕೋರೆಗಾಂವ್ ಯುದ್ಧವನ್ನು ಗೆಲ್ಲಲು ಸಾಧ್ಯವಾಯಿತು. ಗೆಲುವಿಗೆ ಕಾರಣರಾದ, ಕದನದಲ್ಲಿ ಹುತಾತ್ಮರಾದ ಯೋಧರನ್ನು ಸದಾಕಾಲ ಸ್ಮರಿಸುವಂತೆ ಕೋರೆಗಾಂವನ ಭೀಮಾನದಿ ತೀರದ ಪ್ರಶಸ್ತವಾದ ಮೈದಾನ, ಕದನದ ಕಿಡಿ ಮೊಟ್ಟ ಮೊದಲು ಹೊತ್ತಿದ ಸ್ಥಳದಲ್ಲಿ ಬ್ರಿಟಿಷರು ಸ್ಮರಣ ಸ್ತಂಭವನ್ನು ಸ್ಥಾಪಿಸಿದರು.
26 ನೆಯ ಮಾರ್ಚ್ 1821 ರಲ್ಲಿ ಈ ಭವ್ಯ ವಿಜಯಸ್ತಂಭಕ್ಕೆ ಅಡಿಗಲ್ಲು ಹಾಕಿದಾಗ ಬಂದೂಕು ಮತ್ತು ತೋಪುಗಳ ಮೂಲಕ ಹುತಾತ್ಮರಿಗೆ ರಾಜಮರ್ಯಾದೆಯ ಶ್ರದ್ಧಾಂಜಲಿ ಸಲ್ಲಿಸಲಾಯಿತು. 63 ಅಡಿ ಎತ್ತರ ಇರುವ ಈ ವಿಜಯಸ್ತಂಭವು 1822 ರಲ್ಲಿ ಪೂರ್ಣವಾಗಿ ನಿರ್ಮಾಣವಾಯಿತು. ಮೊದಲಿಗೆ ಈ ಸ್ತಂಭವನ್ನು ಮಹಾರ್ ಸ್ತಂಭವೆAದು ಕರೆಯಲಾಗುತ್ತಿತ್ತು. ನಂತರದಲ್ಲಿ ವಿಜಯಸ್ತಂಭವೆಂದು ಹೆಸರಿಸಲಾಯಿತು.
ವಿಜಯಸ್ತಂಭದ ಮೇಲೆ 20 ಮಹಾರ್ ಸೈನಿಕರ ಹೆಸರುಗಳನ್ನು ಕೆತ್ತಿಸಲಾಗಿದೆ. ಪ್ರತಿವರ್ಷ ಜನೆವರಿ 1 ರಂದು ಬಾಬಾಸಾಹೇಬರು ಕೋರೆಗಾಂವ್ ವಿಜಯಸ್ತಂಭಕ್ಕೆ ಭೇಟಿ ಕೊಟ್ಟು ನಮನವನ್ನು ಸಲ್ಲಿಸುತ್ತಿದ್ದರು. ಇಂತಹ ಐತಿಹಾಸಿಕ ವಿಜಯದ ಸಂಕೇತವಾದ ಕೋರೆಗಾಂವ ಚಳವಳಿಯನ್ನು ಮತ್ತೆ ಮತ್ತೆ ನೆನೆಯುವುದು ಇಂದಿನ ಅನಿವಾರ್ಯವೂ ಹೌದು. ಏಕೆಂದರೆ ಬಾಬಾಸಾಹೇಬರೇ ಹೇಳಿದ ಹಾಗೆ “ಇತಿಹಾಸವನ್ನು ತಿಳಿಯದವನು ಇತಿಹಾಸವನ್ನು ಸೃಷ್ಟಿಸಲು ಸಾಧ್ಯವಾಗದು” ಎಂದಿದ್ದಲ್ಲದೆ ದಲಿತರಾರೂ ಕುರಿಗಳಲ್ಲ, ಅವರು ಹುಲಿಗಳು’ ಎಂದು ಹೇಳಿರುವುದನ್ನು ಮತ್ತೆ ಮತ್ತೆ ಮನನಿಸಬೇಕಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಕುವೆಂಪು ಅವರಿಗೆ ಲಂಕೇಶರ ಎಂಟು ಪ್ರಶ್ನೆಗಳು
ಕುವೆಂಪು ಅವರನ್ನು ನಾನು ಅಂದು ನೋಡಿದ್ದು ಎರಡನೆ ಸಲ. ನಾನು ನೋಡಲು ಬಂದಿರುವ ವಿಷಯ ತಿಳಿದು ಕೈಯಲ್ಲಿ ನನ್ನ ಪ್ರಶ್ನೆ ಮತ್ತು ತಮ್ಮ ಉತ್ತರಗಳಿಂದ ಕೂಡಿದ ಟೈಪ್ ಮಾಡಿದ ಹಾಳೆಗಳನ್ನು ಹಿಡಿದುಕೊಂಡು ಬಂದರು. ನಾನು ಮತ್ತು ಮಿತ್ರ ನೆಲಮನೆ ದೇವೇಗೌಡರು ನಮಸ್ಕರಿಸಿದೊಡನೆ ಕೂತು ಪ್ರಶ್ನೆ ಮತ್ತು ಉತ್ತರಗಳನ್ನು ಓದುತ್ತ ವಿವರಿಸತೊಡಗಿದರು.
ತಮಗೆ ಯಾವುದೇ ಜಾತಿಯ ಬಗ್ಗೆ ಒಣ ಅಭಿಮಾನವಾಗಲಿ ಅನಗತ್ಯ ಪೂರ್ವಗ್ರಹವಾಗಲಿ ಇಲ್ಲವೆಂದು ಸ್ಪಷ್ಟಪಡಿಸಿದರು. ಅವರ ಮಾತಿನಲ್ಲಿ ತಮ್ಮ ಉತ್ತರಗಳು ಜನಕ್ಕೆಲ್ಲಿ ತಿಳಿಯುವುದಿಲ್ಲವೋ ಎಂಬ ಆತಂಕವಿದ್ದಂತಿತ್ತು. ಆದ್ದರಿಂದ ತಮ್ಮ ಕೃತಿಗಳಿಂದ ಉದಾಹರಣೆ ಎತ್ತಿಕೊಂಡು ಮಾತಾಡಿದರು. ನಾನು ಅವೆಲ್ಲವನ್ನೂ ಓದಿದ್ದೆನಾದ್ದರಿಂದ ಆ ವಿವರಣೆ ಅನಗತ್ಯವಾಗಿತ್ತು. ಆದರೆ ಕುವೆಂಪು ಅವರಿಗೆ ಅದಮ್ಯ ಉತ್ಸಾಹವಿದೆ; ಈ ಸಮಾಜದ ಕೆಡಕುಗಳ ಬಗ್ಗೆ ಕೋಪವಿದೆ. ತಾವು ಎಷ್ಟೇ ಬರೆದರೂ ಮಾತಾಡಿದರೂ ಈ ಜನತೆ ಸರಿಹೋಗುತ್ತದೋ ಇಲ್ಲವೋ ಎಂಬ ಸಂದೇಹವಿದೆ. ಆದ್ದರಿಂದಲೇ ಹಲವೊಮ್ಮೆ ವ್ಯಗ್ರವಾಗಿ ಮಾತಾಡುತ್ತಾರೆ. ಅವರು ನನ್ನ ಪ್ರಶ್ನೆಗಳಿಗೆ ಉತ್ತರ ಹೇಳುತ್ತ ಹೊಸ ಸಾಹಿತ್ಯದ ಬಗ್ಗೆ ಮಾತಾಡಿರುವುದನ್ನೂ ಈ ಅರ್ಥದಲ್ಲೇ ತೆಗೆದುಕೊಳ್ಳಬೇಕೆಂದು ಕಾಣುತ್ತದೆ.
ಕಿರಿಯ ಲೇಖಕರು ಯಾರಿಗೂ ಅರ್ಥವಾಗದ ಗೊಂದಲಗಳಲ್ಲಿ ಸಿಲುಕಿಕೊಂಡು ತಮ್ಮನ್ನು ತಾವು ಮೋಸಗೊಳಿಸಿಕೊಳ್ಳುವ ಬದಲು ಸಮಾಜಕ್ಕೆ ತಮ್ಮನ್ನು ತಾವು ತೆರೆದುಕೊಳ್ಳಬೇಕೆಂದೂ ಸಮಾಜದ ಅನಿಷ್ಟಗಳನ್ನು ಸರಿಪಡಿಸಬೇಕೆಂದೂ ಅವರು ಸೂಚಿಸುತ್ತಾರೆ. ಇದು ಕಿರಿಯ ಬರಹಗಾರರು ಅನುಭವ ಪಡೆಯುವ ಬಗ್ಗೆ ಉತ್ತಮ ಹಿತವಚನ. ಇನ್ನೊಂದು ಬಗೆಯಲ್ಲಿ ಇದು ನೀತಿ ಪಾಠ. ಇವೆರಡೂ ಕುವೆಂಪು ಮಾತುಗಳಲ್ಲಿರುವುದು ಎಂಥವರಿಗೂ ಕಂಡು ಬರುತ್ತದೆ.
ಆವೊತ್ತು ಮಾತಾಡುವ ಮೂಡಲ್ಲಿದ್ದರು ಕುವೆಂಪು ನಾವಿಬ್ಬರೂ ಕೆಲಸದ ಮೂಡಿನಲ್ಲಿದ್ದೆವು. ಅವರು ತಮ್ಮ ‘ರಾಮಾಯಣ ದರ್ಶನಂ’ನಿಂದ ಓದಿ ತೋರಿಸುವುದಾಗಿ ಸೂಚಿಸಿ ಬೇರೊಂದು ವಿಷಯ ಎತ್ತಿಕೊಂಡು ವಿವರಿಸತೊಡಗಿದರು. ‘ಪಾಂಚಾಲಿ’ ವಿವಿಧ ತೊಡಕುಗಳಲ್ಲಿ ಸಿಲುಕಿದ್ದ ನಾನು ಮತ್ತು ದೇವೇಗೌಡರು ನಮಸ್ಕಾರ ಹೇಳಿ ಹೊರಬಿದ್ದೆವು.
ಕುವೆಂಪು ಒಂದು ಸಂಸ್ಥೆ ಅಥವಾ ದೇವತೆಯಾಗಿ ಹುಂಬರ ಮನಸ್ಸಿನಲ್ಲಿ ಬೆಳೆಯುತ್ತಿದ್ದ ವೇಳೆಗೆ ಸರಿಯಾಗಿ ಅವರು ಮೈಕೊಡವಿಕೊಂಡು ಹೊರಬಂದು ಮನುಷ್ಯರೂ ವಿಚಾರವಾದಿಗಳೂ ಆಗಿ ಮಾತಾಡುತ್ತಿದ್ದುದು ನನಗೆ ಸಂತಸ ಉಂಟುಮಾಡಿತ್ತು.
——————————————————————-
ಲಂಕೇಶ್: ಸಾಮಾನ್ಯವಾಗಿ ಸಾರ್ವಜನಿಕ ಸಭೆಗಳಲ್ಲಿ ಮತ್ತು ವಾದವಿವಾದಗಳಲ್ಲಿ ಭಾಗವಹಿಸದ ತಾವು ಈಚೆಗೆ ಹೀಗೆ ಭಾಗವಹಿಸುವ ಮೂಲಕ ತಮ್ಮ ವಿಶಿಷ್ಟ ಬಗೆಯ ಕೀರ್ತಿಗೆ ಕಳಂಕ ತಂದುಕೊಳ್ಳುತ್ತಿರಬಹುದೇ ಎಂಬ ಅಳುಕು ತಮ್ಮ ಅಭಿಮಾನಿಗಳಲ್ಲಿ ಕೆಲವರಿಗಿದೆ. ಈ ಬಗ್ಗೆ ತಮ್ಮ ಅಭಿಪ್ರಾಯವೇನು?
ಕುವೆಂಪು: ಕೀರ್ತಿಗಿಂತಲೂ ನನಗೆ ಹೆಚ್ಚು ಪ್ರಿಯವಾದದ್ದು ಸತ್ಯ. ಸತ್ಯ ಹೇಳಿದರೆ ಕಲುಷಿತವಾಗುವ ಕೀರ್ತಿ ಭ್ರಷ್ಟಾಚಾರದ ವಸ್ತುವಾಗುತ್ತದೆ. ಅಲ್ಲದೆ ‘ಕೀರ್ತಿಶನಿ’ ಎಂಬ ನನ್ನ ಸಾನೆಟ್ಟಿನಲ್ಲಿ ಅನೇಕ ವರ್ಷಗಳ ಹಿಂದೆಯೇ ನಾನು ಅದನ್ನು ‘ತೊಲಗಾಚೆ’ ಎಂದು ತೊಲಗಿಸಿದ್ದೇನೆ. ಆದರೂ, ಶ್ರೀ ಎ.ಆರ್. ಕೃಷ್ಣಶಾಸ್ತ್ರಿಗಳು ಹೇಳಿದಂತೆ, ಶನಿ ಒಮ್ಮೆ ಬೆನ್ನು ಹತ್ತಿದರೆ ಬಿಡುವುದಿಲ್ಲವಂತೆ. ನನ್ನ ಮತ್ತೊಂದು ಸಾನೆಟ್ ‘ಯಶೋಲಕ್ಷ್ಮಿ’ ಈ ವಿಚಾರವಾಗಿ ನನ್ನ ಭಾವನೆ ಏನು ಎಂಬುದನ್ನು ತಿಳಿಸುತ್ತದೆ. ಕೀರ್ತಿ ಕಲುಷಿತವಾಗುವುದಿರಲಿ ಅಪಕೀರ್ತಿಯೆ ಬಂದರು ಸತ್ಯ ಹೇಳುವುದನ್ನು ಬಿಡುವುದಿಲ್ಲ.
ಲಂಕೇಶ್: ಕೆಟ್ಟಿರಲಿ, ಕೆಡದಿರಲಿ ಭಾರತೀಯ ಸಂಸ್ಕೃತಿಯೆಂದರೆ ವೈದಿಕ ಸಂಸ್ಕೃತಿಯೇ ಎಂಬ ಅಭಿಪ್ರಾಯದ ಬಗ್ಗೆ ನಿಮಗೇನೆನ್ನಿಸುತ್ತದೆ?
ಕುವೆಂಪು: ಇದೊಂದು ತಪ್ಪು ಅಭಿಪ್ರಾಯ. ಭಾರತೀಯ ಸಂಸ್ಕೃತಿ ಬರಿಯ ವೈದಿಕವಲ್ಲ. ಅವೈದಿಕವೂ ಅದರ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿದೆ. ಬೌದ್ಧ, ಜೈನಗಳಲ್ಲದೆ ನ್ಯಾಯ, ವೈಶ್ಲೇಷಿಕ, ಸಾಂಖ್ಯ, ಯೋಗ ದರ್ಶನಗಳೂ ವೇದದ ಪರಮ ಪ್ರಾಮಾಣ್ಯವನ್ನು ಅವಿಚಾರಕವಾಗಿ ಒಪ್ಪಬೇಕು ಅನ್ನುವುದಿಲ್ಲ. ನನ್ನದು ವಿಶ್ವಸಂಸ್ಕೃತಿ. ಅಭಾರತೀಯವೂ ಅದರಲ್ಲಿ ಸೇರಿದೆ. ಸನಾತನವೂ (ಪುರಾತನ ಅಲ್ಲ.) ಶಾಶ್ವತವೂ ಆಧ್ಯಾತ್ಮಿಕವೂ ವಿಚಾರ ಮತ್ತು ವಿಜ್ಞಾನಗಳಿಗೆ ಅವಿರುದ್ಧವೂ ಆಗಿರುವ ಸತ್ಯ ಎಲ್ಲಿಯೇ ಇರಲಿ ಅದನ್ನು ನಾನು ಸ್ವೀಕರಿಸಿದ್ದೇನೆ.
ಲಂಕೇಶ್: ಬ್ರಾಹ್ಮಣ ಜಾತಿಯಲ್ಲಿ ಹಲವು ಒಳಪಂಗಡಗಳಿದ್ದರೂ ಕೇವಲ ಒಂದು ಪಂಗಡವನ್ನು ನೀವು ಟೀಕಿಸಿದ್ದು ಕೇವಲ ಉದಾಹರಣೆಗೋ ಅಥವಾ ಆ ಪಂಗಡ ತೀರಾ ಮಲಿನಗೊಂಡಿದೆ ಎಂಬ ಕಾರಣಕ್ಕೋ?
ಕುವೆಂಪು: ನನ್ನ ಭಾಷಣ ಬ್ರಾಹ್ಮಣರಿಗಾಗಲಿ, ಮಾಧ್ವರಿಗಾಗಲೀ ನಿರ್ದೆಶಿಸಿದ್ದಲ್ಲ; ಒಕ್ಕೂಟದವರಿಗಾಗಿ ಮಾತ್ರ. ಜಗತ್ತಿನ ಪುರೋಹಿತಶಾಹಿ ಅವೈಚಾರಿಕ ಮತ್ತು ಅವೈಜ್ಞಾನಿಕ ಮೂಢ ಭಾವನೆಗಳ ಆಶ್ರಯದಲ್ಲಿ ಶ್ರೀ ಸಾಮಾನ್ಯರನ್ನು ಹೇಗೆ ವಂಚಿಸುತ್ತಾ ಬಂದಿದೆ ಎನ್ನುವುದನ್ನು ಕುರಿತು ವಿಚಾರವಾದಿಗಳಾಗಿ ಬಾಳನ್ನು ನಡೆಸಬೇಕು ಎನ್ನುವ ತರುಣರಿಗೆ ತಿಳಿಸುತ್ತಿದ್ದೆ. ಪ್ರಾಸಂಗಿಕವಾಗಿ, ನಾನು ಕೆಲವೇ ದಿನಗಳ ಹಿಂದೆ ಆ ಪುಸ್ತಕಗಳನ್ನು ಓದುತ್ತಿದ್ದು ಸಂಗತಿ ಮನಸ್ಸಿನಲ್ಲಿ ಹೊಚ್ಚ ಹೊಸದಾಗಿ ಇದ್ದುದರಿಂದ ಮಧ್ವ-ಜಯತೀರ್ಥರ ನಿದರ್ಶನಗಳನ್ನು ಕೊಟ್ಟೆನಷ್ಟೆ; ಆಮೇಲೆ ಗುಲ್ಲೆದ್ದ ಮತಭ್ರಾಂತರ ಗಲಾಟೆಯಿಂದಲೇ ಗೊತ್ತಾದದ್ದು ನಾನು ಎಂತಹ ಹೇಸಿಗೆಯ ಹೊಂಡಕ್ಕೆ ಕಲ್ಲು ಎಸೆದಿದ್ದೇನೆ ಎಂದು.
ಲಂಕೇಶ್: ತಮ್ಮ ಕಾವ್ಯದ ಮತ್ತು ಮುಖ್ಯ ಕಥಾಸಾಹಿತ್ಯದ (fiction) ಕೇಂದ್ರ ನಿಲುವು ವೈದಿಕ, ಆದರ್ಶಮಯ, ಅವಾಸ್ತವ ಎಂದು ಹಲವರು ಟೀಕಿಸುತ್ತಾರೆ. ಇದಕ್ಕೆ ತಮ್ಮ ಉತ್ತರವೇನು?
ಕುವೆಂಪು: ಅವರ ತಲೆ; ನನ್ನದು ವಿಶ್ವಪ್ರಜ್ಞೆ. ನಾನು ಭಾರತೀಯನಾಗಿ ಅದರಲ್ಲೂ ಕನ್ನಡಿಗನಾಗಿ ಹುಟ್ಟಿದ್ದರಿಂದ ಆ ಸಂಸ್ಕೃತಿಯ ಮತ್ತು ಆ ಭಾಷೆಯ ಪರಿಭಾಷೆಯನ್ನು ಅನಿವಾರ್ಯವಾಗಿ ಉಪಯೋಗಿಸುತ್ತೇನಷ್ಟೆ. ಸತ್ಯ ವೈದಿಕವಾಗಿ ಪ್ರಕಟವಾದ ಮಾತ್ರಕ್ಕೆ ಅಸತ್ಯವಾಗುವುದಿಲ್ಲ. ಆದರ್ಶಮಯವಾದ ಮಾತ್ರಕ್ಕೆ ಅವಾಸ್ತವವಾಗುವುದಿಲ್ಲ. ನನ್ನ ಭಾಷಣದ ಉದ್ದೇಶವೆ ಒಕ್ಕೂಟದ ಹುಡುಗರನ್ನು ಅಂತಹ ತಪ್ಪುದಾರಿಗೆ ಹೋಗದಿರುವಂತೆ ತಡೆಯಬೇಕು ಎಂಬುದಾಗಿತ್ತು. ಚಿನ್ನದ ಒಡವೆಯನ್ನು ಅಕ್ಕಸಾಲಿ ಮಾಡಿದ ಮಾತ್ರಕ್ಕೆ ಚಿನ್ನ ಅಸತ್ಯವಾಗುತ್ತದೆಯೇ? ಗ್ರಾವಿಟೇಶನ್ ಸಿದ್ಧಾಂತವನ್ನು ನ್ಯೂಟನ್ ಕಂಡುಹಿಡಿದ ಮಾತ್ರಕ್ಕೆ ಅದು ಕ್ರೈಸ್ತವಾಗುತ್ತದೆಯೇ? ವೇದದ ಋಷಿ ಸನಾತನ ಶಾಶ್ವತ ಸತ್ಯವನ್ನು ಸಾಕ್ಷಾತ್ಕರಿಸಿಕೊಂಡು ಅದಕ್ಕೆ ‘ಬ್ರಹ್ಮನ್’ ಎಂದು ಹೆಸರು ಕೊಟ್ಟ ಮಾತ್ರಕ್ಕೆ ಆ ಸತ್ಯ ಆ ಋಷಿಯ ಸೃಷ್ಠಿಯಾಗುತ್ತದೆಯೇ? ಆ ಸತ್ಯ ಋಷಿಗೆ ಪೂರ್ವದಲ್ಲಿಯೇ ಇದ್ದುದು; ಆ ಋಷಿ ಮಾತ್ರವಲ್ಲ ಮನುಷ್ಯರೆಲ್ಲ ಮುಗಿದ ಮೇಲೆಯೂ ಆ ಸತ್ಯಕ್ಕೆ ಚ್ಯುತಿ ಬರುವುದಿಲ್ಲ. ಗುರುತ್ವಾಕರ್ಷಣ ಶಕ್ತಿ ನ್ಯೂಟನ್ನಿಗೆ ಪೂರ್ವದಲ್ಲಿಯೂ ಇತ್ತು, ಮನುಷ್ಯ ಕುಲವೇ ನಾಶವಾದ ಮೇಲೆಯೂ ಇರುತ್ತದೆ.
ಅಂತಹ ಸತ್ಯವನ್ನು ನಿತ್ಯ, ಸನಾತನ ಶಾಶ್ವತ ಎನ್ನುತ್ತೇವೆ. ಬೇರೆ ಬೇರೆ ದೇಶಗಳು, ಬೇರೆ ಬೇರೆ ಭಾಷೆಗಳೂ ಬೇರೆ ಬೇರೆ ಹೆಸರು ಕೊಡಬಹುದಷ್ಟೆ. ನನ್ನ ಜೀವನ ದರ್ಶನ ಅಂತಹ ಅಚ್ಯುತ ಸತ್ಯದ ಮೇಲೆ ನಿಂತಿದೆ. ನನ್ನ ಸಾಹಿತ್ಯವೂ ಅದನ್ನೆ ಅಭಿವ್ಯಕ್ತಗೊಳಿಸುತ್ತದೆ. ಅದನ್ನು ‘ನಿಮ್ಮಲ್ಲಿ’ ಕೆಲವರು ‘ವೈದಿಕ’ ಎಂದು ನಿಂದಿಸುವಂತೆ ‘ಅವರಲ್ಲಿ’ ಕೆಲವರು ‘ಅವೈದಿಕ’ ಎಂದೂ ತಿರಸ್ಕರಿಸುತ್ತಾರೆ. ಆದರೆ ನನ್ನ ಸಾಹಿತ್ಯ ಉದ್ಭವಿಸುವುದು ಬದುಕಿನಿಂದ, ಬದುಕಿಗಾಗಿ; ಮತ್ತು ಬದುಕಿನಾಚೆಯ ಬದುಕಿಗಾಗಿ.
ಲಂಕೇಶ್: ಈಚೆಗೊಬ್ಬರು ತಮ್ಮ ಸಾಮಾಜಿಕ ವಿಮರ್ಶೆಯನ್ನು ಕುರಿತು ಹೇಳುತ್ತಾ ‘ಕುವೆಂಪು ಅವರ ಮಾತಿನಲ್ಲಿ ಬ್ರಾಹ್ಮಣ ವಿರೋಧಿ ಧ್ವನಿ ಕೇಳಿ ಬರುತ್ತಿದ್ದರೆ ಅದಕ್ಕೆ ಕಾರಣವನ್ನು ಅವರ ವೈಯಕ್ತಿಕ ಅನುಭವದಲ್ಲಿ ಹುಡುಕಬೇಕು’ ಎಂದಿದ್ದಾರೆ. ಇದಕ್ಕೆ ತಮ್ಮ ಪ್ರತಿಕ್ರಿಯೆ?
ಕುವೆಂಪು: ಶುದ್ಧ ಅಪಾರ್ಥ! ಮೊದಲನೆಯದಾಗಿ ಅದು ಬ್ರಾಹ್ಮಣ ವಿರೋಧಿ ಧ್ವನಿಯಲ್ಲ. ಅಂದರೆ ಬೌದ್ಧ, ಜೈನ, ಕ್ರೈಸ್ತ, ಇಸ್ಲಾಂ ಮತ್ತು ಲಿಂಗಾಯಿತ ಪುರೋಹಿತಶಾಹಿಯನ್ನೂ ಒಳಗೊಂಡಿದೆ. ನನ್ನ ಪುರೋಹಿತಶಾಹಿ ಖಂಡನೆಗೆ ಕಾರಣವನ್ನು ನನಗಿರಬಹುದಾದ ವೈಯಕ್ತಿಕ ಅನುಭವದಲ್ಲಿ ಹುಡುಕುವುದು ಅತ್ಯಂತ ಹಾಸ್ಯಾಸ್ಪದ. ನನ್ನ ಮೂವತ್ತು ನಲವತ್ತು ವರ್ಷದ ಹಿಂದಿನ ಬರಹವನ್ನು ಯಾರೋ ಒಬ್ಬರು ಅಂದು ಟೀಕಿಸಿದುದಕ್ಕಾಗಿ ಇಂದು ನಾನು ನಲವತ್ತು ವರ್ಷಗಳ ಮೇಲೆ ರೊಚ್ಚು ತೀರಿಸಿಕೊಳ್ಳುವುದಕ್ಕೆ ಹಾಗೆ ಮಾತನಾಡಿದೆನೆಂದು ಹೇಳುವುದು ನನ್ನ ವ್ಯಕ್ತಿತ್ವಕ್ಕೆ ಅತ್ಯಂತ ‘ಅಲ್ಪತನ’ ಆರೋಪಿಸಿದಂತಾಗುತ್ತದೆ. ನಾನು ಅಷ್ಟು ‘ಸಣ್ಣ’ವನಲ್ಲ. ನಲವತ್ತು ಐವತ್ತು ವರ್ಷಗಳಿಂದಲೂ ನಾನು ಗದ್ಯ, ಪದ್ಯ, ನಾಟಕ ಎಲ್ಲದರಲ್ಲಿಯೂ ಹೇಳುತ್ತಾ ಬಂದಿರುವುದನ್ನೆ ಮೊನ್ನೆಯು ಹೇಳಿದ್ದೇನೆ ಅಷ್ಟೆ. ಆದರೆ ಇವರು ಯಾರೂ ನೀವೂ ಸೇರಿ, ನನ್ನ ಬರಹಗಳನ್ನು ಅಷ್ಟು ಆಸ್ಥೆಯಿಂದ ಓದಿಯೇ ಇಲ್ಲ ಎಂಬುದು ನನ್ನ ಗುಮಾನಿ. ಇಡೀ ರಾಮಾಯಣದರ್ಶನವೆ ನನ್ನ ‘ದರ್ಶನ’ಕ್ಕೆ ಒಡ್ಡಿದ ಮಹಾ ಪ್ರತಿಮೆಯಾಗಿದೆ. (ನಿಮ್ಮ ಎರಡನೆಯ ಪ್ರಶ್ನೆಗೆ ಕೊಟ್ಟಿರುವ ಉತ್ತರವನ್ನೂ ನೋಡಬಹುದು.)
ಲಂಕೇಶ್: ‘ಬ್ರಾಹ್ಮಣ’ ‘ಶೂದ್ರ’ ‘ಮಣ್ಣಿನ ವಾಸನೆ’ ಇತ್ಯಾದಿ ಮಾತು ಬಹಳವಾಗಿ ಕೇಳಿಬರುತ್ತಿರುವ ಈ ಕಾಲದಲ್ಲಿ ಬ್ರಾಹ್ಮಣ, ಶೂದ್ರರ ಭಾಷೆ, ಅನುಭವ ದೃಷ್ಟಿಯನ್ನು ಕುರಿತ ತಮ್ಮ ವಿಶ್ಲೇಷಣೆ ಏನು?
ಕುವೆಂಪು: ಈ ಮಾತುಗಳೆಲ್ಲ ಮತ್ತೆ ಪುರೋಹಿತಶಾಹಿಯ ಪಿತೂರಿಯ ಟಂಕಸಾಲೆಯ ನಾಣ್ಯಗಳೆ. ನಿಮ್ಮನ್ನು ದಿಕ್ಕು ತಪ್ಪಿಸಿ ಬದುಕಿನ ಋಜುಮಾರ್ಗದಿಂದ ಕಟಂಕಿತ ಮಾರ್ಗಕ್ಕೆ ತಳ್ಳುವ ಉಪಾಯದಿಂದಲೆ ಅವರು ಅವನ್ನು ಹುಟ್ಟಿಸಿದ್ದಾರೆ. ನೀವೂ ಹಿಂದಿನಂತೆಯೇ ಇಂದು ಬೆಪ್ಪುಗಳಾಗಿ ಅದಕ್ಕೆ ವಶರಾಗಿ, ಜನರ ಬದುಕನ್ನು ಮತಮೌಢ್ಯದಿಂದ ಪಾರು ಮಾಡಿ ಅವರನ್ನು ವೈಚಾರಿಕ ಬುದ್ಧಿ ಮತ್ತು ವೈಜ್ಞಾನಿಕ ದೃಷ್ಟಿ ಸಂಪನ್ನರಾಗಿ ಪರಿವರ್ತಿಸಿ ಅವರ ಮನಸ್ಸು ಮತ್ತು ಹೃದಯಗಳನ್ನು ಬೆಳಗುವ, ಅವರ ಸೋತ ಹೃದಯಗಳನ್ನು ಹುರಿದುಂಬಿಸುವ, ಮತ್ತು ವರ್ಣ, ಜಾತಿ ಭೇದಭಾವನೆಗಳನ್ನೆಲ್ಲ ಕಸದ ಬುಟ್ಟಿಗೆ ತೂರಿ ಅವರನ್ನು ಸಮಾನತಾವಾದಿಗಳನ್ನಾಗಿ ಪರಿವರ್ತಿಸುವ ಸಾಹಿತ್ಯ ಸೃಷ್ಟಿ ಮಾಡುವ ಬದಲು, ಗುಂಪುಗಾರಿಕೆಗಲ್ಲದೆ ಮತ್ತೆ ಯಾರಿಗೂ ಬೇಡದ ಮತ್ತು ಯಾರಿಗೂ ಅರ್ಥವಾಗದ ‘ನವ್ಯ’ ನಾಮಕ ವಿಕಾರ ಸೃಷ್ಟಿಗೆ ಮರುಳಾಗಿ ಹೋಗಿದ್ದೀರಿ. ಅಂತಹ ಕೃತಕ ಅನುಕರಣೀಯ ಪಂಥಗಳನ್ನೆಲ್ಲ ನಿಮ್ಮ ಹೃದಯದಿಂದ ಕಿತ್ತೊಗೆದು, ನಿಮ್ಮವರ ಬದುಕನ್ನು ನೇರವಾಗಿ ನೋಡಿ ಅದರಿಂದ ಉದ್ಭವಿಸುವ ಸಮಸ್ಯೆಗಳನ್ನು ಅರ್ಥ ಮಾಡಿಕೊಂಡು ಅವರನ್ನು ಮೇಲಕ್ಕೆತ್ತುವ ಧೀರಭಾವಗಳನ್ನೂ ಕ್ರಿಯಾಶೀಲ ಆದರ್ಶಗಳನ್ನೂ ನಿಮ್ಮ ಬರವಣಿಗೆಗಳಲ್ಲಿ ನೀಡಬೇಕಾಗಿರುವುದು ಸದ್ಯದ ನಿಮ್ಮ ಆದ್ಯ ಕರ್ತವ್ಯ. ಪುರೋಹಿತಶಾಹಿಯ ಮೆಚ್ಚುಗೆಗೂ ಹೊಗಳಿಕೆಗೂ ಹಾತೊರೆದು ಬಾಯಿ ಬಿಟ್ಟು ನಿಮ್ಮ ಪೌರುಷ ತೇಜಸ್ಸುಗಳಿಗೆ ಅಪಮಾನ ಮಡಿಕೊಳ್ಳುವುದನ್ನು ಒಡನೆಯೇ ನಿಲ್ಲಿಸಿಬಿಡಿ. (ಮಾನಸ ಗಂಗೋತ್ರಿಯಲ್ಲಿ ಏರ್ಪಡಿಸಿದ್ದ ಲೇಖಕರ ಗೋಷ್ಠಿಯನ್ನು ಉದ್ಘಾಟಿಸುತ್ತಾ ನಾನು ಮಾಡಿದ ಭಾಷಣವನ್ನು ಗಮನವಿಟ್ಟು ಓದಿ ನೋಡಿದರೆ ನನ್ನ ಅಭಿಪ್ರಾಯಗಳು ಸ್ಪಷ್ಟಗೊಳ್ಳುತ್ತವೆ.)
ಲಂಕೇಶ್: ಕನ್ನಡ ಸಾಹಿತಿಗಳು ಬಹುಕಾಲದಿಂದ ಈ ನಾಡ ಹೆಸರಿನ ಬದಲಾವಣೆ, ಕನ್ನಡ ಮಾಧ್ಯಮ ಕುರಿತು ಮಾತನ್ನಾಡುತಿದ್ದರೂ ಕೇವಲ ಹೆಸರಿನ ಬದಲಾವಣೆ ಮಾತ್ರ ಆಗಿ ಮಾಧ್ಯಮದ ಪ್ರಶ್ನೆ ಹಾಗೇ ಉಳಿದಿದೆ. ಇದು ಸಾಹಿತಿಯ ಪ್ರಭಾವದ ದೌರ್ಬಲ್ಯ ತೋರುತ್ತದೆಯೆ?
ಕುವೆಂಪು: ಹಾಗೇನಿಲ್ಲ, ಈಗಾಗಲೆ ತಕ್ಕಷ್ಟು ಕಾರ್ಯ ನಡೆದಿದೆ. ನಡೆಯುತ್ತಲೂ ಇದೆ. ಜನತೆ, ಸರಕಾರ, ಸಾಹಿತ್ಯ ಪರಿಷತ್ತು ಮತ್ತು ವಿಶ್ವವಿದ್ಯಾಲಯಗಳು ಎಲ್ಲವೂ ಕನ್ನಡ ಮಾಧ್ಯಮ ತತ್ವವನೊಪ್ಪಿ ಕ್ರಿಯಾಶೀಲವಾಗಿ ಮುಂದುವರೆಯುತ್ತಿವೆ. ಅದು ಪೂರ್ತಿ ಕೈಗೂಡಲು ತುಸು ಸಮಯ ಬೇಕಾಗಬಹುದು ಅಷ್ಟೆ.
ಲಂಕೇಶ್: ಈ ನಾಡ ತರುಣರಿಗೆ ತಮ್ಮ ಹಿತವಚನವೇನು?
ಕುವೆಂಪು: ನನ್ನ ಸಾಹಿತ್ಯದಲ್ಲಿ- ಕತೆ, ಕಾದಂಬರಿ, ಭಾವಗೀತೆ, ಕಾವ್ಯ, ಮಹಾಕಾವ್ಯ, ಜೀವನ ಚರಿತ್ರೆ, ಭಾಷಣ, ವಿಮರ್ಶೆ ಇತ್ಯಾದಿ- ನಾನು ಹೇಳಬೇಕಾದ್ದೆಲ್ಲವನ್ನೂ ಹೇಳಿದ್ದೇನೆ. ಇಷ್ಟವಿರುವ ತರುಣರು ಅವುಗಳನ್ನು ಮನಸ್ಸಿಟ್ಟು ಓದಲಿ. ವಿಶೇಷವಾಗಿ, ಅದರ ಮುನ್ನುಡಿ ಸಹಿತ ‘ಆತ್ಮಶ್ರೀಗಾಗಿ ನಿರಂಕುಶಮತಿಗಳಾಗಿ’ ಎಂಬ ಪುಸ್ತಕದ ನಾಲ್ಕು ಭಾಷಣಗಳನ್ನಾದರೂ ಓದಲಿ. ಆದರೆ ನಾಲ್ಕನ್ನೂ ಸಮಗ್ರವಾಗಿ ತೆಗೆದುಕೊಳ್ಳಬೇಕು, ಅಷ್ಟೆ.- ಸರ್ವೋದಯ, ಸಮನ್ವಯ ಮತ್ತು ಪೂರ್ಣದೃಷ್ಟಿ ಇವುಗಳೇ ಎಲ್ಲರ ಧ್ಯೇಯಮಂತ್ರಗಳಾಗಲಿ.
ಕೃಪೆ: -‘ಪಾಂಚಾಲಿ’ (ದೀಪಾವಳಿ-ರಾಜ್ಯೋತ್ಸವ ವಿಶೇಷ ಸಂಚಿಕೆ, ಪುಟ: 11-14, 1974)
ಸಂಪಾದಕರು: ಪಿ. ಲಂಕೇಶ್
ಸುದ್ದಿದಿನ.ಕಾಂ|ವಾಟ್ಸಾಪ್|9980346243



