ದಿನದ ಸುದ್ದಿ
ವಿಧಾನಸಭಾ ಚುನಾವಣೆ | ಕಣದಲ್ಲಿರುವ ಅಭ್ಯರ್ಥಿಗಳೆಷ್ಟು ಗೊತ್ತಾ..!?
ಸುದ್ದಿದಿನ, ಬೆಂಗಳೂರು: ರಾಜ್ಯ ವಿಧಾನಸಭೆಯ ಸಾರ್ವತ್ರಿಕ ಚುನಾವಣೆ ಇದೇ 10 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ, ಚುನಾವಣಾ ಆಯೋಗ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದೆ.
224 ವಿಧಾನಸಭಾ ಕ್ಷೇತ್ರಗಳಲ್ಲಿ, ಒಟ್ಟು 58 ಸಾವಿರದ 545 ಮತಗಟ್ಟೆಗಳನ್ನು ಸ್ಥಾಪಿಸಲಾಗುತ್ತಿದೆ. ಸೂಕ್ಷ್ಮ ಮತ್ತು ಅತೀ ಸೂಕ್ಷ್ಮ ಮತಗಟ್ಟೆಗಳಲ್ಲಿ ಕೇಂದ್ರ ಮೀಸಲುಪಡೆ ಜೊತೆಗೆ ರಾಜ್ಯ ಪೊಲೀಸ್ ಸಿಬ್ಬಂಧಿಯನ್ನು ಸಹ ನಿಯೋಜಿಸಲಾಗುತ್ತಿದೆ.
ಸೂಕ್ಷ್ಮ ಪ್ರದೇಶಗಳಲ್ಲಿ ವ್ಯಾಪಕ ಬಂದೋಬಸ್ತ್ ಕೈಗೊಳ್ಳಲಾಗುವುದು. 224 ವಿಧಾನಸಭಾ ಕ್ಷೇತ್ರದಲ್ಲಿ 184ಮಹಿಳೆಯರು ಸೇರಿದಂತೆ ಒಟ್ಟು 2 ಸಾವಿರದ 615 ಅಭ್ಯರ್ಥಿಗಳು ಕಣದಲ್ಲಿದ್ದಾರೆ. 5 ಕೋಟಿ 31 ಲಕ್ಷ 33 ಸಾವಿರದ 54 ಮತದಾರರು, ಮತದಾನಕ್ಕೆ ಅರ್ಹತೆ ಹೊಂದಿದ್ದಾರೆ.
ಚಾಮರಾಜನಗರದಲ್ಲಿ-982 ಮತಗಟ್ಟೆಗಳನ್ನು ಸ್ಥಾಪಿಸಲಾಗುವುದು. ಚುನಾವಣೆ ಕಾರ್ಯಕ್ಕೆ ವೀಕ್ಷಕರು, ವೆಚ್ಚದ ವೀಕ್ಷಕರು ಸೇರಿದಂತೆ ಹಲವಾರು ಉನ್ನತ ಅಧಿಕಾರಿಗಳನ್ನು ನಿಯೋಜನೆ ಮಾಡಲಾಗಿದೆ.
ರಾಜ್ಯಾದ್ಯಂತ ಇದುವರೆಗೆ 105 ಕೋಟಿ ರೂಪಾಯಿ ನಗದು ಹಣವನ್ನು ವಶಪಡಿಸಿಕೊಳ್ಳಲಾಗಿದೆ. 230 ಕೋಟಿ ರೂಪಾಯಿ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು ತಿಳಿಸಿದ್ದಾರೆ.
ಎಲ್ಲಾ ಮತಗಟ್ಟೆಗಳಿಗೂ ವ್ಯಾಪಕ ಬಂದೋಬಸ್ತ್ ಮಾಡಿಕೊಳ್ಳಲಾಗಿದ್ದು, ಮತಗಟ್ಟೆಗಳಲ್ಲಿ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲಾಗುತ್ತಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.
ಬುಧವಾರ ಬೆಳಗ್ಗೆ 7 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ಮತದಾನ ನಡೆಯಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243