ದಿನದ ಸುದ್ದಿ
ಕಳಪೆ ಬಿತ್ತನೆ ಬೀಜ ಮಾರಾಟ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ : ಕೃಷಿ ಸಚಿವ ಬಿ.ಸಿ. ಪಾಟೀಲ್
ಸುದ್ದಿದಿನ,ದಾವಣಗೆರೆ : ಕೊರೊನಾ ಲಾಕ್‍ಡೌನ್ ಹಿನ್ನೆಲೆಯಲ್ಲಿ ಈಗಾಗಲೇ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬಿತ್ತನೆ ಸಮಯದಲ್ಲಿ ಕಳಪೆ ಬೀಜ ವಿತರಿಸಿದರೆ ರೈತರನ್ನು ನೇರವಾಗಿ ಕೊಲೆ ಮಾಡಿದಂತಾಗುತ್ತದೆ. ಕಳಪೆ ಬಿತ್ತನೆ ಬೀಜ ಮಾರಾಟ ಮಾಡುವವರ ಮೇಲೆ ಯಾವುದೇ ಮುಲಾಜಿಲ್ಲದೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಸೂಚಿಸಿದರು.
ಗುರುವಾರ ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ಕೊರೊನಾ ವೈರಸ್ ನಿಯಂತ್ರಣ ಹಾಗೂ ರೈತರಿಗೆ ಮಾರುಕಟ್ಟೆ ಒದಗಿಸುವ ಕುರಿತು ಕರೆಯಲಾಗಿದ್ದ ವಿವಿಧ ಇಲಾಖೆಯ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಳಪೆ ಬಿತ್ತನೆ ಬೀಜ ಮಾರಾಟ ಮಾಡುವವರು ಎಷ್ಟೇ ಪ್ರಭಾವಶಾಲಿಗಳಾಗಿದ್ದರು ಸಹ ಅವರ ಮೇಲೆ ಮುಲಾಜಿಲ್ಲದೆ ಕ್ರಿಮಿನಲ್ ಕೇಸ್ ದಾಖಲಿಸಿ, ಅಂಗಡಿ ಪರವಾನಗಿಯನ್ನು ರದ್ದುಪಡಿಸಲಾಗುವದು ಎಂದರು.
ಲಾಕ್‍ಡೌನ್ ಅವಧಿಯಲ್ಲಿ ರೈತರ ಕೃಷಿ ಚಟುವಟಿಕೆಗಳಿಗೆ ಯಾವುದೇ ರೀತಿಯ ತೊಂದರೆ ಆಗಬಾರದು. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸೂಚಿಸಿದಂತೆ ಕೃಷಿ ಮತ್ತು ವೈದ್ಯಕೀಯ ಚಟುವಟಿಕೆಗಳಿಗೆ ವಿನಾಯಿತಿ ನೀಡಿದೆ. ಜೊತೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚಿಸಿದ ಹಿನ್ನೆಲೆಯಲ್ಲಿ ರೈತರ ಬೆಳೆಗಳಿಗೆ ಮಾರುಕಟ್ಟೆ ಸೌಲಭ್ಯ ಒದಗಿಸಿ ಪೂರೈಕೆಗೆ ಅವಕಾಶ ಕಲ್ಪಿಸಲಾಗಿದೆ. ರೈತರು ಯಾವುದೇ ರೀತಿಯ ಆತಂಕಕ್ಕೆ ಒಳಗಾಗದೆ ಮಾರುಕಟ್ಟೆಗೆ ಬಂದು ಬೆಳೆ ಮಾರಾಟ ಮಾಡಬಹುದಾಗಿದೆ ಎಂದು ತಿಳಿಸಿದರು.
ದೇಶದಲ್ಲಿ ಲಾಕ್‍ಡೌನ್ ತೆರವಾಗಿಲ್ಲ. ಮೈಮರೆಯದಂತಹ ಭೀಕರ ಪರಿಸ್ಥಿತಿ ಇದಾಗಿದೆ. ಒಂದು ಸಂತೋಷದ ವಿಷಯವೇನೆಂದರೆ ಇಲ್ಲಿಯವರೆಗೂ ಯಾವೊಬ್ಬ ರೈತರಿಗೂ ಸಹ ಕೊರೊನಾ ವೈರಸ್ ಸೋಂಕು ತಗುಲಿಲ್ಲ. ಅವರು ಕೃಷಿ ಚಟುವಟಿಕೆಗಳಲ್ಲಿ ನಿರಂತರವಾಗಿ ನಿರತರಾಗಿರುವುದರಿಂದ ಅವರಲ್ಲಿ ರೋಗ ನಿರೋಧಕ ಶಕ್ತಿ ಅಧಿಕವಾಗಿರುತ್ತದೆ. ರೈತರು ತಾವು ಬೆಳೆದ ಬೆಳೆಯನ್ನು ಮಾರುಕಟ್ಟೆಗೆ ತಂದಾಗ ಸಾಮಾಜಿಕ ಅಂತರ ಕಾಯ್ದುಕೊಂಡು ಮಾರಾಟ ಮಾಡಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಗಮನಹರಿಸಬೇಕು. ರೈತರು ಲಾಕ್‍ಡೌನ್ ಹಿನ್ನೆಲೆಯಲ್ಲಿ ಆತ್ಮಸ್ಥೈರ್ಯ ಕಳೆದುಕೊಳ್ಳದೆ, ಧೃತಿಗೆಡದೆ ಕೃಷಿ ಚಟುವಟಿಕೆ ಕಾರ್ಯದಲ್ಲಿ ತೊಡಗಬೇಕು. ಸರ್ಕಾರವು ಸದಾ ನಿಮ್ಮೊಂದಿಗೆ ಇದೆ ಎಂದು ರೈತರಿಗೆ ಭರವಸೆ ನೀಡಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ಶಾಸಕರಾದ ಎಂ.ಪಿ.ರೇಣುಕಾಚಾರ್ಯ, ಪ್ರೊ.ಲಿಂಗಣ್ಣ, ಎಸ್.ವಿ.ರಾಮಚಂದ್ರ, ಎಸ್.ಎ.ರವೀಂದ್ರನಾಥ್, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಯಶೋಧಮ್ಮ ಮರುಳಪ್ಪ, ಪಾಲಿಕೆ ಮೇಯರ್ ಅಜಯ್ ಕುಮಾರ್, ದೂಡಾ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್, ಜಿಲ್ಲಾ ಪಂಚಾಯತ್ ಸಿಇಒ ಪದ್ಮಾ ಬಸವಂತಪ್ಪ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಹನುಮಂತರಾಯ, ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243