ರಾಜಕೀಯ
ಪ್ರವಾಹ ಸಂತ್ರಸ್ತರಿಗೆ ರಾಜ್ಯ ಸರ್ಕಾರದಿಂದ ಗರಿಷ್ಠ ಮಟ್ಟದ ಪರಿಹಾರ : ಯಡಿಯೂರಪ್ಪ
ಸುದ್ದಿದಿನ ಡೆಸ್ಕ್ : ಪ್ರಸಕ್ತ ಮಳೆ ನೆರೆಯಿಂದ ಸಂತ್ರಸ್ತರಾದವರಿಗೆ ಗರಿಷ್ಠ ಮಟ್ಟದ ಪರಿಹಾರವನ್ನು ರಾಜ್ಯ ಸರ್ಕಾರ ಒದಗಿಸಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.
ಅವರು ಸೋಮವಾರ ಧರ್ಮಸ್ಥಳದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪ ಪರಿಹಾರ ಕ್ರಮಗಳ ಪರಿಶೀಲನೆ ನಡೆಸಿ ಮಾತನಾಡಿದರು.
ಅತಿವೃಷ್ಠಿ ಸಂತ್ರಸ್ತರಿಗೆ ಮನೆ ರಿಪೇರಿ ಮಾಡಲು ಒಂದು ಲಕ್ಷ ರೂ. ನೆರವು ನೀಡಲಾಗುತ್ತದೆ. ಪೂರ್ತಿ ಮನೆ ಕಳೆದುಕೊಂಡವರಿಗೆ ಮನೆ ನಿರ್ಮಾಣ ಮಾಡಲು 5 ಲಕ್ಷ ರೂ. ಪರಿಹಾರ ಮಂಜೂರು ಮಾಡಲಾಗುವುದು. ತಕ್ಷಣಕ್ಕೆ 10 ಸಾವಿರ ರೂ. ನೀಡಲಾಗುತ್ತದೆ. ಸಂತ್ರಸ್ತರು ಬಾಡಿಗೆ ಮನೆಯಲ್ಲಿ ವಾಸಿಸುವುದಾದರೆ ಮಾಸಿಕ 5 ಸಾವಿರ ರೂ. ನೀಡಲಾಗುತ್ತದೆ ಎಂದರು.
ನಿವೇಶನ ರಹಿತರಿಗೆ ಸರಕಾರದಿಂದ ನಿವೇಶನ ನೀಡಲಾಗುವುದು. ಇದು ಇಡೀ ರಾಜ್ಯಕ್ಕೆ ಅನ್ವಯವಾಗಲಿದೆ ಎಂದು ಅವರು ತಿಳಿಸಿದರು.
ಪರಿಹಾರ ಮಂಜೂರಾತಿಯಲ್ಲಿ ಸಂತ್ರಸ್ತರಿಗೆ ಕಾನೂನಿನ ನೆಪವೊಡ್ಡಿ ಯಾವುದೇ ರೀತಿಯಲ್ಲಿ ಸತಾಯಿಸಬಾರದು. ಸಂತ್ರಸ್ತ ಪ್ರದೇಶಗಳಲ್ಲಿ ಸಾಂಕ್ರಾಮಿಕ ರೋಗಗಳು ಹರಡದಂತೆ ಆರೋಗ್ಯ ಇಲಾಖೆ ಮುನ್ನೆಚ್ಚರಿಕೆ ವಹಿಸಬೇಕು. ಶುದ್ಧ ಕುಡಿಯುವ ನೀರನ್ನು ಒದಗಿಸಬೇಕು ಎಂದು ಅವರು ಹೇಳಿದರು.
ಅತಿವೃಷ್ಠಿಯಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಂದಾಜು 274 ಕೋಟಿ ರೂಪಾಯಿ ನಷ್ಟವಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದರು. ಇದಕ್ಕೂ ಮೊದಲು ತೀವ್ರ ಮಳೆಯಿಂದ ಹಾನಿಗೀಡಾದ ಬೆಳ್ತಂಗಡಿ ತಾಲೂಕಿನ ಕುಕ್ಕಾವು ಗ್ರಾಮಕ್ಕೆ ಮುಖ್ಯಮಂತ್ರಿ ಭೇಟಿ ನೀಡಿ ಪರಿಶೀಲಿಸಿದರು. ಬಳಿಕ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥೇಶ್ವರ ದರ್ಶನ ಪಡೆದರು. ಮುಖ್ಯಮಂತ್ರಿಗಳಿಗೆ ಸ್ಮರಣಿಕೆ ನೀಡಿ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಗೌರವಿಸಿದರು.