ದಿನದ ಸುದ್ದಿ
ಸಂಸತ್ತಿನ ಬಜೆಟ್ ಅಧಿವೇಶನದ ಹಿನ್ನೆಲೆ ; ಇದೇ 30ರಂದು ಸರ್ವಪಕ್ಷಗಳ ಸಭೆ
ಸುದ್ದಿದಿನ ಡೆಸ್ಕ್ : ಸಂಸತ್ತಿನ ಮುಂಬರುವ ಬಜೆಟ್ ಅಧಿವೇಶನದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಇದೇ 30ರಂದು ಸರ್ವಪಕ್ಷಗಳ ಸಭೆಯನ್ನು ಕರೆದಿದೆ. ಸಂಸತ್ ಭವನದ ಸಂಕೀರ್ಣದಲ್ಲಿ ಸೋಮವಾರ ಮಧ್ಯಾಹ್ನ 12 ಗಂಟೆಗೆ ಸಭೆ ನಡೆಯಲಿದೆ.
ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ, ಕೇಂದ್ರ ಸಚಿವರು ಮತ್ತು ಸಂಸತ್ತಿನ ಎರಡೂ ಸದನಗಳನ್ನು ಪ್ರತಿನಿಧಿಸುವ ಸದನ ನಾಯಕರು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಸಭೆಯಲ್ಲಿ ಸರ್ಕಾರ ಸಂಸತ್ತಿನ ಉಭಯ ಸದನಗಳ ಸುಗಮ ಕಲಾಪಕ್ಕೆ ಎಲ್ಲ ರಾಜಕೀಯ ಪಕ್ಷಗಳ ಸಹಕಾರವನ್ನು ಕೋರಲಿದೆ. ಸಂಸತ್ತಿನ ಬಜೆಟ್ ಅಧಿವೇಶನ ಇದೇ 31ರಿಂದ ಆರಂಭವಾಗಲಿದೆ. ಮೊದಲ ದಿನ ಬೆಳಿಗ್ಗೆ 11 ಗಂಟೆಗೆ ಸೆಂಟ್ರಲ್ ಹಾಲ್ ನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡುವರು.
ಅದೇ ದಿನವೇ ಆರ್ಥಿಕ ಸಮೀಕ್ಷೆಯನ್ನೂ ಸಹ ಮಂಡಿಸಲಾಗುವುದು. ಫೆಬ್ರವರಿ 1ರಂದು 2023-24ನೇ ಸಾಲಿನ ಕೇಂದ್ರ ಬಜೆಟ್ ಅನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡನೆ ಮಾಡಲಿದ್ದಾರೆ.
ಬಜೆಟ್ ಅಧಿವೇಶನ ಏಪ್ರಿಲ್ 6ವರೆಗೆ ನಡೆಯಲಿದ್ದು, ಸುಮಾರು 66 ದಿನಗಳಲ್ಲಿ 27 ಕಲಾಪಗಳು ನಡೆಯಲಿದೆ. ಮೊದಲ ಅವಧಿಯಲ್ಲಿ ಅಧಿವೇಶನ ಫೆಬ್ರವರಿ 13ರವರೆಗೆ ನಡೆಯಲಿದೆ. ಫೆಬ್ರವರಿ 14ರಿಂದ ಮಾರ್ಚ್ 12ರವರೆಗೆ ಅಧಿವೇಶನಕ್ಕೆ ಬಿಡುವು ಇರಲಿದೆ ಆನಂತರ ಮಾರ್ಚ್ 13ರಿಂದ ಆರಂಭವಾಗುವ ಅಧಿವೇಶನ ಏಪ್ರಿಲ್ 6ಕ್ಕೆ ಕೊನೆಗೊಳ್ಳಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980336243