ದಿನದ ಸುದ್ದಿ
ಬಾಡ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶಾಸಕ ಕೆ.ಎಸ್.ಬಸವಂತಪ್ಪ ದಿಢೀರ್ ಭೇಟಿ
ಸುದ್ದಿದಿನ,ದಾವಣಗೆರೆ:ಮಾಯಕೊಂಡ ಕ್ಷೇತ್ರದ ವ್ಯಾಪ್ತಿಯ ಕೆಲವು ಸರ್ಕಾರಿ ಶಾಲೆಗಳಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ ಇದ್ದು, ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಮೂಲಭೂತ ಸೌಲಭ್ಯ ಕಲ್ಪಿಸುವ ಮೂಲಕ ಶಾಲೆಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ಶಾಸಕ ಕೆ.ಎಸ್.ಬಸವಂತಪ್ಪ ಹೇಳಿದರು.
ತಾಲೂಕಿನ ಬಾಡ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಬುಧವಾರ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಕ್ಕಳು ಮತ್ತು ಶಿಕ್ಷಕರ ಹಾಜರಾಗಿ, ಬಿಸಿಯೂಟ, ಮೊಟ್ಟೆ ವಿತರಣೆ ಬಗ್ಗೆ ಮುಖ್ಯ ಶಿಕ್ಷಕರ ಬಳಿ ಮಾಹಿತಿ ಪಡೆದುಕೊಂಡರು.
ಈ ವೇಳೆ ರಸ್ತೆ ಸಂಪರ್ಕವಿಲ್ಲದೆ ಮಕ್ಕಳು ಶಾಲೆಗೆ ಹೋಗಿ ಬರಲು ಮಕ್ಕಳಿಗೆ ತೊಂದರೆ ಆಗುತ್ತಿದೆ. ರಸ್ತೆ ನಿರ್ಮಿಸಿಕೊಡಬೇಕು. ಮಕ್ಕಳ ಸಂಖ್ಯೆ ಹೆಚ್ಚಿರುವುದರಿಂದ ಹೆಚ್ಚುವರಿ ಕೊಠಡಿಗಳನ್ನು ನಿರ್ಮಿಸಿಕೊಡಬೇಕೆಂದು ಶಾಸಕರಿಗೆ ಗ್ರಾಮಸ್ಥರು ಮನವಿ ಮಾಡಿದರು. ಬಳಿಕ ಮಾತನಾಡಿದ ಅವರು, ಶಾಲೆಯಲ್ಲಿ ಎಲ್‌ಕೆಜಿಯಿಂದ ೭ನೇ ತರಗತಿಯವರೆಗೆ ಸುಮಾರು ೨೦೦ಕ್ಕೂ ಹೆಚ್ಚು ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದು, ಮುಂದಿನ ದಿನಗಳಲ್ಲಿ ಹೆಚ್ಚುವರಿ ಕೊಠಡಿಗಳನ್ನು ನಿರ್ಮಿಸುವುದಾಗಿ ಭರವಸೆ ನೀಡಿದರು.
ಇದೇ ರೀತಿ ಕ್ಷೇತ್ರದ ವ್ಯಾಪ್ತಿಯ ಕೆಲವು ಸರ್ಕಾರಿ ಶಾಲೆಗಳಲ್ಲಿ ಶಿಥಿಲಗೊಂಡ ಕಟ್ಟಡ, ಆಟದ ಮೈದಾನ, ಶಾಲೆಯ ಕಾಂಪೌಂಡ್, ಹೆಚ್ಚುವರಿ ಕೊಠಡಿಗಳ ನಿರ್ಮಾಣ, ಪೀಠೋಪಕರಣಗಳು ಹೀಗೆ ಜ್ವಲಂತ ಸಮಸ್ಯೆಗಳು ಇವೆ. ಮುಖ್ಯಮಂತ್ರಿಗಳು ಹಾಗೂ ಸಂಬಂಧಪಟ್ಟ ಶಿಕ್ಷಣ ಸಚಿವರೊಂದಿಗೆ ಚರ್ಚಿಸಿ ಹೆಚ್ಚಿನ ಅನುದಾನ ತರುವ ಮೂಲಕ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಹೆಚ್ಚಿನ ಗಮನ ಹರಿಸುವುದಾಗಿ ತಿಳಿಸಿದರು.
ಮಕ್ಕಳು ಈ ದೇಶದ ಆಸ್ತಿ. ಅವರಿಗೆ ಗುಣಮಟ್ಟ ಶಿಕ್ಷಣ ಕೊಡುವ ಮೂಲಕ ಅವರನ್ನು ಸತ್ಪçಜೆಗಳನ್ನಾಗಿ ರೂಪಿಸುವ ಹೊಣೆಗಾರಿಕೆ ಶಿಕ್ಷಕರ ಮೇಲಿದೆ. ಕೇವಲ ತಿಂಗಳ ಸಂಬಳ ಕಾಯದೆ, ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡಲು ಹೆಚ್ಚಿನ ಆಸಕ್ತಿ ವಹಿಸಬೇಕು. ಭವಿಷ್ಯದ ಉತ್ತಮ ನಾಯಕರನ್ನು ರೂಪಿಸುವ ಹೊಣೆಗಾರಿಕೆ ನಿಮ್ಮ ಮೇಲಿದೆ ಎಂದು ಶಿಕ್ಷಕರಿಗೆ ಕಿವಿಮಾತು ಹೇಳಿದರು.
ಬಿಸಿಯೂಟ, ಸಮವಸ್ತ್ರ, ಪಠ್ಯ ಪುಸ್ತಕ, ಮೊಟ್ಟೆ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಕಲ್ಪಿಸಲು ಸರ್ಕಾರ ಮಕ್ಕಳ ಶಿಕ್ಷಣಕ್ಕೆ ಕೋಟ್ಯಂತರ ರೂಪಾಯಿ ಖರ್ಚು ಮಾಡುತ್ತಿದೆ. ಅದನ್ನು ವ್ಯರ್ಥ ಮಾಡದೆ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕು. ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಹೆಚ್ಚಿಸಲು ಗಮನ ಹರಿಸಬೇಕೆಂದು ತಾಕೀತು ಮಾಡಿದರು. ಈ ಸಂದರ್ಭದಲ್ಲಿ ಗ್ರಾಮಸ್ಥರು, ಮಕ್ಕಳ ಪೋಷಕರು, ಶಿಕ್ಷಕರು ಹಾಜರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243