ಅಂತರಂಗ
ದಾಸೋಹ ಪರಿಕಲ್ಪನೆ..!
- ಸಂಗಮೇಶ ಎನ್ ಜವಾದಿ, ಕೊಡಂಬಲ, ಬೀದರ್
ಜಗತ್ತಿನಲ್ಲಿಯೇ ಮೊದಲು ನಡೆದ ಸಾಮಾಜಿಕ ಚಳುವಳಿಗಳಲ್ಲಿ ಹನ್ನೆರಡನೇ ಶತಮಾನದ ವಚನ ಚಳವಳಿ ಅಪರೂಪವಾದುದು ಅಷ್ಟೇ ಪ್ರಮುಖವಾದುದು. ಐತಿಹಾಸಿಕ ಮಹತ್ವವುಳ್ಳ ಈ ಚಳವಳಿ ಭಾರತದಲ್ಲಿ ನಡೆದ ಮೊದಲ ಸಂಘಟಿತ ಸಾಮಾಜಿಕ ಚಳುವಳಿಯಾಗಿದೆ.
ಇದರಲ್ಲಿ ಸಮಾಜದ ಯಾವುದೋ ಒಂದು ಮುಖದ ದೋಷಗಳನ್ನು ಪ್ರಸ್ತಾಪಿಸಿ ಅವುಗಳ ನಿವಾರಣೆಗೆ ಪ್ರಯತ್ನಿಸದೇ ಸಮಾಜ ಎದುರಿಸುತ್ತಿದ್ದ ಎಲ್ಲಾ ರೀತಿಯ ಸಮಸ್ಯೆಗಳನ್ನು ಗುರುತಿಸಿ ಅವುಗಳನ್ನು ನಿವಾರಿಸಿ ಸಮಾಜದ ಸಮಗ್ರ ಅಭಿವೃದ್ಧಿಯ ಬಗ್ಗೆ ಚಿಂತಿಸಿತು. ಅದಕ್ಕಾಗಿ ಅನೇಕ ಮಹತ್ವದ ಪರಿಕಲ್ಪನೆಗಳನ್ನು ಸೃಷ್ಟಿಸಿಕೊಂಡಿತು. ಅಂಥ ಪರಿಕಲ್ಪನೆಗಳಲ್ಲಿ ಮುಖ್ಯವಾದವುಗಳೆಂದರೆ..
- ಷಟ್ಸ್ತಲ
- ಗುರು-ಲಿಂಗ-ಜಂಗಮ
- ಕಾಯಕ-ಪ್ರಸಾದ-ದಾಸೋಹ
ಇವುಗಳಲ್ಲಿ ಬಹಳ ಮುಖ್ಯವಾದ ದಾಸೋಹದ ಬಗ್ಗೆ ವಚನಕಾರರ ರಚನೆಗಳನ್ನು ಆಧರಿಸಿ ಕೆಲವು ವಿಚಾರಗಳನ್ನು ತಿಳಿಯಬಹುದು. ವಚನಕಾರರ ವಿಚಾರಗಳು ಸಮಕಾಲೀನ ಸಮಾಜದ ಸಂದರ್ಭದಲ್ಲಿ ಹೇಗೆ ಪ್ರಸ್ತುತವಾಗಿವೆ ಎಂಬುದನ್ನು ತಿಳಿಯುವುದು ಇಂದಿನ ದಿನಗಳಲ್ಲಿ ಅಗತ್ಯವಾಗಿದ್ದು ಅಂಥ ಪ್ರಯತ್ನ ಇಲ್ಲಿ ಮಾಡಲಾಗಿದೆ. ದಾಸೋಹದ ತತ್ವವನ್ನು ಕುರಿತು ಬಹುತೇಕ ಎಲ್ಲಾ ಶಿವಶರಣರು ಮಾತನಾಡಿರುವುದು ಅವರ ವಚನಗಳಿಂದ ನಮಗೆ ತಿಳಿದು ಬರುತ್ತದೆ.
ಕಾಯಕವಳಿದ ಠಾವಿನಲ್ಲಿ ಜೀವನ ಸುಳಿವುಂಟೆ ?
ದಾಸೋಹವಳಿದ ಠಾವಿನಲ್ಲಿ ದೇವರ ಕೃಪೆಯುಂಟೆ ?
ಕಾಯಕ ದಾಸೋಹವಳಿದ ಠಾವಿನಲ್ಲಿ ದೇವರಕೃಪೆಯುಂಟೇ
ಕಾಯಕ ದಾಸೋಹಗಳುಕೂಡಿದಲ್ಲಿ ಅದೇ
ಶಿವ ಜೀವೈಕ್ಯವು ; ಮಾರಯ್ಯ ಪ್ರಿಯ ಅಮರೇಶ್ವರ ಲಿಂಗದಲ್ಲಿ.
ಎನ್ನುವ ಈ ವಚನ ಶಿವಶರಣೆ ಆಯ್ದಕ್ಕಿ ಲಕ್ಕಮ್ಮನ ದಾಗಿದೆ. ದಾಸೋಹದ ಪರಿಕಲ್ಪನೆಯನ್ನು ಎಳೆ ಎಳೆಯಾಗಿ, ಜನಸಾಮಾನ್ಯರಿಗೆ ತಿಳಿಯುವಂತೆ ವಚನ ರಚನೆ ಮಾಡಿದ್ದಾರೆ.ಕಾಯಕವು ಎಲ್ಲಿ ಇಲ್ಲವೋ ಅಲ್ಲಿ ಜೀವನಕ್ಕೆ ಅರ್ಥವಿಲ್ಲ ; ದಾಸೋಹ ಇಲ್ಲದಿದ್ದಲ್ಲಿ ಸೃಷ್ಟಿಕರ್ತನ ಕೃಪೆ ಸೀಗುವುದಿಲ್ಲಾ, ಕಾಯಕ-ದಾಸೋಹಗಳು ಎಲ್ಲಿ ಇರುತ್ತವೋ ಅಲ್ಲಿ ಸೃಷ್ಟಿಕರ್ತನ ಕೃಪೆ ಸದಾ ಇರುತ್ತದೆ, ನೆಮ್ಮದಿ – ಸಂತೋಷ ಹಾಗೂ ಸ್ನೇಹ ಮಯ ಸಾಮರಸ್ಯ ಜೀವನ ಸಹ ನಮ್ಮದಾಗುತ್ತದೆ ಎಂದು ವಿವರಿಸಿದ್ದಾರೆ.
ಹಾಗಾಗಿ ನಾವೆಲ್ಲರೂ ಕಾಯಕ ಮಾಡಬೇಕು. ಕಾಯಕವೆಂದರೆ ಸತ್ಯದ ನೆಲೆಗಟ್ಟಿನ ಮೇಲೆ ಶುದ್ಧವಾಗಿ , ಲೋಕ ಹಿತಕ್ಕಾಗಿ ಉತ್ಪಾದನೆಯಲ್ಲಿ ತೊಡಗುವ ಕ್ರಿಯೆ. ಮಾನವ ಕುಲಕ್ಕೆ ಹಾನಿಯುಂಟುಮಾಡುವ ಯಾವುದೇ ಕೆಲಸ ಕಾಯಕವಲ್ಲ. ನಿಜವಾದ ಕಾಯಕದಿಂದ ಬಂದಿದ್ದನ್ನು ದೇವರ ಪ್ರಸಾದವೆಂದು ತಿಳಿಯಬೇಕು. ಗಳಿಸಿದ್ದನ್ನೆಲ್ಲ ನಮಗಾಗಿ ಬಳಸದೇ ಅಥವಾ ಸಂಗ್ರಹಿಸದೇ ಸಾಮಾಜಿಕ ಜವಾಬ್ಧಾರಿಯನ್ನು ಪ್ರದರ್ಶಿಸಬೇಕು. ಎಷ್ಟು ಬೇಕೋ ಅಷ್ಟು ಐಹಿಕ ವಸ್ತುಗಳನ್ನು ಪ್ರಸಾದದ ಹಾಗೆ ಸ್ವೀಕರಿಸಬೇಕು. ಅದಕ್ಕಿಂತ ಹೆಚ್ಚಿನದು ವಿಷ ವಸ್ತುವಾಗಿ ಪರಿಣಮಿಸುತ್ತದೆ.
ಅವುಗಳ ಬಳಕೆಯಿಂದ ಭವರೋಗ ಬರುವುದು. ಆದ್ದರಿಂದ ಅವಶ್ಯಕತೆಗಿಂತ ಹೆಚ್ಚಿನ ವಸ್ತುಗಳನ್ನು ವಿಷ ವಸ್ತುವಾಗಿಸದೇ ದಾಸೋಹ ರೂಪದಲ್ಲಿ ಸಮಾಜಕ್ಕೆ ಅರ್ಪಿಸುವುದೇ ಭವ ರೋಗದಿಂದ ಮುಕ್ತವಾಗುವ ಕ್ರಮ.ಆ ದಿಸೆಯಲ್ಲಿ ಪ್ರತಿಯೊಬ್ಬರೂ ಚಾಚೂ ತಪ್ಪದೇ ಪಾಲಿಸಿಕೊಂಡು ಬರುವುದು ಶ್ರೇಷ್ಠ ಸನ್ಮಾರ್ಗ ಎಂಬುದು ನಾವೆಲ್ಲರೂ ನೆನಪಿಡಬೇಕಾದದ್ದು ಅತಿ ಮುಖ್ಯ.
ಸೋಹಂ ಎಂದೆನಿಸದೇ ದಾಸೋಹಂ ಎಂದೆನಿಸಯ್ಯಾ ಎಂಬ ಬಸವ ವಾಣಿಯಂತೆ ನಾವೆಲ್ಲರೂ ಹೆಜ್ಜೆ ಹಾಕುವುದು ಸೊಕ್ತ, ಕೇವಲ ತೋರಿಕೆಗಾಗಿ ದಾಸೋಹ ಸೇವೆ ಮಾಡದೇ ಅಂತರಂಗದ ಆತ್ಮ ಶಾಂತಿಗಾಗಿ ದಾಸೋಹ ಮಾಡುವ ಮೂಲಕ ಹಸಿದವರ ಹಸಿವನ್ನು ನೀಗಿಸುವ ಕೆಲಸವನ್ನು ನಿರಂತರವಾಗಿ ನಮ್ಮ ಜೀವಿತಾವಧಿಯಲ್ಲಿ ಮಾಡೋಣ.
ಶರಣರು ಹಾಕಿಕೊಟ್ಟ ಮಾರ್ಗದಲ್ಲಿ ನಡೆಯುವ ಮೂಲಕ ಸರ್ವರ ಹಿತವನ್ನು ಬಯಸುವ ದಿಸೆಯಲ್ಲಿ ಕಾಯಕ ಮಾಡುತ್ತಾ,ಕಾಯಕದಲ್ಲಿ ಬರುವ ಸ್ವಲ್ಪ ಹಣದಲ್ಲಿ ದಾಸೋಹ ಮಾಡೋಣ, ಮಾಡುವ ಮೂಲಕ ಇತರರಿಗೆ ಅಂದರೆ ಜಗತ್ತಿಗೆ ಮಾದರಿಯಾಗೋಣ.
ಶರಣರ ದಾಸೋಹ ಕಲ್ಪನೆ
ವ್ಯಕ್ತಿ ಮತ್ತು ಸಮಾಜಕ್ಕೆ ಕಾಯಕದ ಮೂಲಕ ದಾಸೋಹಕ್ಕೆ ಬೆಸುಗೆ ಹಾಕಿದವರು ಶರಣರು. ಇಂದು ಉದ್ಯೋಗ ಅಥವಾ ವರ್ಕ್ ಎನ್ನುವುದಕ್ಕೆ ಪರ್ಯಾಯವಾಗಿ ಬಳಸಲಾಗುವ ಕಾಯಕ ಎಂಬ ಶಬ್ದಕ್ಕೆ ವಿಭಿನ್ನ ಆಯಾಮಗಳಿವೆ. ವಿಭಿನ್ನ ಅರ್ಥ ಪರಂಪರೆಗಳಿವೆ. ಉದ್ಯೋಗಕ್ಕೂ ಮತ್ತು ಶರಣರು ಬಳಸಿದ ಕಾಯಕಕ್ಕೂ ಅಗಾಧವಾದ ಅಂತರವಿದೆ.
ಉದರ ಪೋಷಣೆಗಾಗಿ, ತನ್ನ ಸಂಸಾರಕ್ಕಾಗಿ ದುಡಿಯುವುದು ಉದ್ಯೋಗವಾದರೆ, ತನ್ನ ಹಿತಾಸಕ್ತಿಯ ಜೊತೆಗೆ ಸಮಷ್ಟಿಯ ಹಿತವನ್ನು ಬಯಸುವ ದಾಸೋಹ ಮನೋಭಾವದಿಂದ ದುಡಿಯುವುದು, ಆತ್ಮೋದ್ಧಾರದ ಜೊತೆಗೆ ಸಮಾಜೋದ್ಧಾರವನ್ನು ಸಾಧಿಸುವ ಉದ್ಯೋಗವೇ ಕಾಯಕ. ಸಾಮಾಜಿಕ, ಧಾರ್ಮಿಕ ಹಾಗೂ ಆರ್ಥಿಕ ವಲಯಗಳನ್ನು ಒಂದು ಕಟ್ಟಿನಲ್ಲಿ ಸುಭದ್ರವಾಗಿ ಕಟ್ಟಬಲ್ಲ ತತ್ವ ಇದು.
ಸತ್ಯಶುದ್ಧ ಹಾದಿಯಲ್ಲಿ ದುಡಿಯುವುದರಿಂದ ಆರಂಭವಾಗಿ ದಾಸೋಹವ ಮಾಡುವಲ್ಲಿ ಕಾಯಕದ ಅರ್ಥ ಪೂರ್ಣವಾಗುವುದು. ದಾಸೋಹದಲ್ಲಿ ಕೊಡುವವನ ಕೈ ಮೇಲಾಗಿರುವುದಿಲ್ಲ; ಪಡೆಯುವವನ ಕೈ ಕೀಳಾಗಿರುವುದಿಲ್ಲ. ಅದೊಂದು ಸಾಮಾಜಿಕ ಜವಾಬ್ದಾರಿಯ ಕಾರ್ಯ. ಹೀಗೆ ‘ಕಾಯಕ’ ಪದಕ್ಕೆ ಪರ್ಯಾಯವೇ ಇಲ್ಲವೆನಿಸುವಷ್ಟು ಅದರ ಅರ್ಥ ವಿಶಾಲವಾಗಿದೆ. “ಅಂದಂದಿನ ಕಾಯಕ ಅಂದಂದು ಮಾಡಿ ಶುದ್ಧವಾಗಿರಬೇಕು” ಎಂದ ಶರಣರು ಅಂತೆಯೇ ನಿಶ್ಚಿಂತವಾಗಿ ಬದುಕಿ ತೋರಿದರು.
ಮಾಡುವ ಕೆಲಸಕ್ಕೆ ಕರ್ಮವಾದವನ್ನು ಹಚ್ಚಿ ಶೋಷಣೆ ಮಾಡುತ್ತಿದ್ದವರಿಗೆ ಈ ನಡೆ ಅನಿರೀಕ್ಷಿತ ಆಘಾತ ತಂದಿತ್ತು. ಕಾಯಕದೊಂದಿಗೆ ಅಸಂಗ್ರಹ ಗುಣವನ್ನೂ, ದಾಸೋಹ ಭಾವವನ್ನೂ ಜೊತೆ ಮಾಡಿದ ಬಗೆ ಅಸಾಧಾರಣ ಬದಲಾವಣೆಗೆ ನಾಂದಿ ಹಾಡಿತು. ಕಾಯಕದಲ್ಲಿ ಸತ್ಯಶುದ್ಧ ಮನಸ್ಸಿನ ಜೊತೆಯಿದೆ. ಪ್ರಾಮಾಣಿಕತೆ ಮೇಳೈಸಿದೆ. ಸಂಗ್ರಹ ಮನೋಭಾವದ ವಾಸನೆಯಿಲ್ಲ. ಚಿತ್ತ ಚಾಂಚಲ್ಯಕ್ಕೆ ಜಾಗವಿಲ್ಲ.ಇಹ-ಪರಗಳ ಉನ್ನತಿಯನ್ನು ಸಾಧಿಸಬಲ್ಲ ಸಾಮರ್ಥ್ಯವಿದೆ ಮತ್ತು ಶರಣರ ಪ್ರಮುಖ ದಂಡನಾಯಕ ಬಸವಣ್ಣನವರು ಖ್ಯಾತ ಅರ್ಥಶಾಸ್ತ್ರಜ್ಞರಾಗಿ – ಸಮಾಜವಾದಿ ಚಿಂತಕರಾಗಿ ಮಾಡಿರುವ ದಾಸೋಹ ಸೇವೆ ಅಪಾರ.
ಹಾಗಾಗಿ ಅವರ ದಾಸೋಹ ವಿಚಾರದಲ್ಲಿ ಸಮಗ್ರ ಸಮಾಜದ ದೃಷ್ಟಿಕೋನವಿರುತ್ತಿತ್ತು. ಕಲ್ಯಾಣವು ಸಮೃದ್ಧಿಯ ಬೀಡಾಗಲು ಕಾರಣವಾದದ್ದು ದಾಸೋಹ ಮಾಡುವ ಕಾಯಕ ಜೀವಿಗಳೇ. ಕಾಯಕದ ತುಡಿತ ಸ್ವಾವಲಂಬಿ ಸಮಾಜ ನಿರ್ಮಾಣ. ಹೊಟ್ಟೆಪಾಡಿಗಾಗಿ ಅಥವಾ ಕುಟುಂಬದ ಪೋಷಣೆಗಾಗಿ ಕೈಗೊಳ್ಳುವ ದುಡಿಮೆ ಕಾಯಕವಾಗಲಾರದು. ಅದೇ ರೀತಿ ಕೀರ್ತಿ- ಪ್ರತಿಷ್ಠೆಗಳಿಗಾಗಿ ಮಾಡುವ ಜನಕಲ್ಯಾಣದ ದಾಸೋಹ ಕಾರ್ಯವೂ ಕಾಯಕ – ದಾಸೋಹವಾಗಲಾರದು. “ಎನ್ನೊಡಲ ಅವಸರಕ್ಕೆ ಕುದಿದೆನಾದಡೆ ತಲೆದಂಡ” ಎನ್ನುತ್ತಾರೆ ಬಸವಣ್ಣನವರು.
ಹೀಗೆ ನಮ್ಮ ಹಿತದೊಂದಿಗೆ ಸಮಷ್ಟಿಯ ಹಿತವನ್ನೂ ಕಾಯುವ ಶಕ್ತಿ ಕಾಯಕ – ದಾಸೋಹದ್ದು. ಸತ್ಯ ಶುದ್ಧದಿಂದ ಗಳಿಸಿದ ಆದಾಯದಲ್ಲಿ ಒಂದು ಪಾಲು ದಾಸೋಹ ರೂಪದಲ್ಲಿ ಸಮಾಜಕ್ಕೂ, ಇನ್ನೊಂದು ಪಾಲು ತೆರಿಗೆಯ ರೂಪದಲ್ಲಿ ರಾಜ್ಯಕ್ಕೂ ಸಂದಾಯವಾಗಬೇಕೆಂಬ ನಿಯಮ ಶರಣರದು. ಇದು ಸಮಷ್ಟಿಯ ಏಳ್ಗೆಯಲ್ಲಿ ತನ್ನ ಅಭಿವೃದ್ಧಿಯನ್ನೂ, ಸಮಷ್ಟಿಯ ಹಿತದಲ್ಲಿ ತನ್ನ ಹಿತವನ್ನೂ ಕಾಣುವ ಶರಣರ ಕಾಯಕ ದಾಸೋಹದ ನಡೆ ಎನ್ನಬಹುದು.ಆದ್ದರಿಂದ ತನು ಮನ ಬಳಲಿಸಿ ತಂದು ದಾಸೋಹವ ಮಾಡುವ ಸದ್ಭಕ್ತನ ತೋರಯ್ಯ ಎನ್ನುತ್ತಾರೆ ಬಸವಣ್ಣನವರು. ಹೀಗೆ ದಾಸೋಹ ತತ್ವವು ಶರಣರು ಜಗತ್ತಿಗೆ ನೀಡಿದ ಶ್ರೇಷ್ಠ ಬಹುದೊಡ್ಡ ಕೊಡುಗೆ.
ಕೊನೆಯದಾಗಿ
12 ನೇ ಶತಮಾನದಲ್ಲಿ ತಾಂಡವವಾಡುತ್ತಿದ್ದ ಸಾಮಾಜಿಕ ಅಸಮಾನತೆ, ಮೌಢ್ಯ, ಕಂದಾಚಾರಗಳನ್ನು ಕಿತ್ತೊಗೆಯುವ ನಿಟ್ಟಿನಲ್ಲಿ ಬಸವಣ್ಣನವರು ಸೇರಿದಂತೆ ಸಕಲ ಶರಣರು ಮಾಡಿದ ಕ್ರಾಂತಿ ಅದ್ಬುತ. ಪ್ರತಿಯೊಬ್ಬರು ತಾವು ದುಡಿದು ಇತರರಿಗೂ ನೀಡಬೇಕು ಎಂಬುದು ಎಲ್ಲಾ ಶಿವಶರಣರ ಕನಸಾಗಿತ್ತು. ಅಂದರಂತೆ 12 ನೇ ಶತಮಾನದಲ್ಲೇ ದಾಸೋಹದ ಪರಿಕಲ್ಪನೆಯ ಕುರಿತು ಜಾಗೃತಿ ಮೂಡಿಸಿ ನುಡಿದಂತೆ ನಡೆದ್ದರು ಜೊತೆಗೆ ಸಾಮಾಜಿಕ ಅಸಮಾನತೆ, ಜಾತೀಯತೆ ಹೋಗಲಾಡಿಸಲು ಮುಂದಾದರು.
ಬಸವಣ್ಣನವರು ಸ್ಥಾಪನೆ ಮಾಡಿದ ಅನುಭವಮಂಟಪದಲ್ಲಿ ಶೇ. 90 ಮಂದಿ ಕೆಳವರ್ಗದ ಶರಣರೇ ಇದ್ದರು. ಲಿಂಗಭೇದ,ಅಸಮಾನತೆ, ಆಸ್ತಿಯ ಅಸಮಾನಹಂಚಿಕೆಯ ವಿರುದ್ಧವೇ ಅಂದು ಬಸವಣ್ಣನವರು ಧ್ವನಿ ಎತ್ತಿ ಹೋರಾಟ ಮಾಡಿದ ಕಾರಣದಿಂದಲೇ ಇಂದು ಕೇಲವರಿಗೆ ನ್ಯಾಯ ಸೀಗುತ್ತಿದೇ ಎನ್ನುವದಂತು ಸುಳ್ಳಲ್ಲ.ಸಕಲ ಜೀವಾತ್ಮರಿಗೂ ಲೇಸನೇ ಬಯಸಿದ್ದರು. ಅಂದರಂತೆ ನಡೆದು ತೋರಿಸಿದ್ದಾರೆ.
ಮಾನವರೆಲ್ಲರೂ ಸಮಾನರು ಎಂದು ಜಾಗತಿಕ ಮಟ್ಟದಲ್ಲಿ ಸಾರಿದ್ದಾರೆ. ಹೀಗಾಗಿ ಅವರ ಆದರ್ಶ ನಿಲುವು – ದಾಸೋಹ ತತ್ವಗಳು ಪಾಲನೆ ಮಾಡುವುದು ಇಂದಿನ ಸಮಾಜಕ್ಕೆ ಅಗತ್ಯವಾಗಿದೆ.ಮಹಿಳೆ ಮತ್ತು ಪುರುಷರು ಎಂಬ ಭೇದ ಭಾವ ಬದಿಗೊತ್ತಿ ಪ್ರತಿಯೊಬ್ಬರು ಕಾಯಕ ಮಾಡಿ, ಜೀವನ ನಡೆಸಬೇಕು ಎನ್ನುವ ಬಸವಣ್ಣನವರ ದಾಸೋಹದ ಪರಿಕಲ್ಪನೆ ಜಗತ್ತಿಗೆ ಮಾದರಿ ಎನ್ನುವುದು ನಾವೆಲ್ಲರೂ ಯಾವತ್ತೂ – ಎಂದೆಂದಿಗೂ ಮರೆಯಬಾರದು ಶರಣ ಬಂಧುಗಳೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಡಾ. ಆತ್ಮಾರಾಮನ ಆತ್ಮನಿವೇದನೆ | ಮೆಟ್ಟಿಲಿನವನು
~ ಯೋಗೇಶ್ ಮಾಸ್ಟರ್
ಮೆಟ್ಟಿಲುಗಳ ಮೇಲೆ ನಿಂತು ದಿಟ್ಟಿಸುತ್ತಿರುವವನ ನೋಡುಗರು ಏನೆಂದು ತಿಳಿದಾರು? ಹತ್ತುತ್ತಿರುವನೆಂದೋ, ಇಳಿಯುತ್ತಿರುವನೆಂದೋ? ಯಾರೇನಾದರೂ ಅಂದುಕೊಳ್ಳಲಿ ಹೊರಗೆ ಹತ್ತುತ್ತಿರುವವನು ಇಳಿಯುತ್ತಿರಬಹುದು. ಇಳಿಯುತ್ತಿರುವವನು ಹತ್ತುತ್ತಿರಬಹುದು.
ಈಗ ಯಾರೂ ನೋಡುತ್ತಿಲ್ಲ. ನಾನು ಹತ್ತುತ್ತಿರುವೆನೋ ಇಳಿಯುತ್ತಿರುವೆನೋ ಯಾರೂ ನೋಡುತ್ತಿಲ್ಲ. ಯಾರೊಬ್ಬರೂ ಇಲ್ಲದಿರುವಾಗಲೂ ನಾನು ನನಗೆ ಪ್ರಾಮಾಣಿಕವಾಗಿ ಇರದಿದ್ದರೆ? ‘ಆತ್ಮಾರಾಮ್, ಈಗೇನು ನೀನು ಏರುತ್ತೀಯೋ, ಇಳಿಯುತ್ತೀಯೋ?’ ಬೇರೊಬ್ಬರು ಕೇಳುವ ಪ್ರಶ್ನೆಗಳಿಗೆ ಉತ್ತರಿಸಿಬಿಡಬಹುದು. ನಾನೇ ಹಾಕಿಕೊಳ್ಳುವ ಪ್ರಶ್ನೆಗೆ ನಾನೇ ಉತ್ತರಿಸುವ ಧೈರ್ಯ ಅಷ್ಟು ಸುಲಭದಲ್ಲಿ ಬರುವುದಿಲ್ಲ.
ನೂರಾರು ಆಪ್ತ ಸಮಾಲೋಚನೆಗಳಲ್ಲಿ ಸಾವಿರಾರು ಪ್ರೊಜೆಕ್ಟಿವ್ ಪ್ರಶ್ನೆಗಳನ್ನು ಕೇಳಿದ್ದೇನೆ. ನನಗೆ ನಾನೇ ಪ್ರೊಜೆಕ್ಟ್ ಮಾಡುವ ಪ್ರಶ್ನೆಯನ್ನು ನಾನು ಹಾಕಿಕೊಳ್ಳಲು ಇದುವರೆಗೂ ಆಗಿಲ್ಲ.
ಇವತ್ತು ಹಾಕಿಕೊಂಡೆ. ಅದ್ಯಾಕೋ ಮೆಟ್ಟಿಲುಗಳು ನನ್ನ ಪ್ರಶ್ನಿಸಿದವು. ಹೇ ಆತ್ಮಾರಾಮ್, ಈಗೇನು? ನೀನು ಏರುತ್ತೀಯೋ? ಇಳಿಯುತ್ತೀಯೋ?’ ಏರಿದ್ದೇನೆಂದುಕೊAಡು ಇಳಿದಿರುವ ನಾನು ಹೇಗೆ ಉತ್ತರಿಸಲಿ? ಮೆಲ್ಲನೆ ಕುಳಿತುಬಿಟ್ಟೆ.
ಹೌದು, ಈ ಮೆಟ್ಟಿಲುಗಳು ಬರೀ ಏರಲಲ್ಲ, ಇಳಿಯಲೂ ಅಲ್ಲ. ಕುಳಿತುಕೊಳ್ಳಲೂ ಹೌದು.
ಒಳಗಿರುವ ಮಾತುಗಳು ಹೊರಗೆಡವಲೂ ಅಲ್ಲ, ಒಳಗೆ ನುಂಗಿಕೊಳ್ಳಲೂ ಅಲ್ಲ. ಆದರೆ ಅವು ಬಹುಕಾಲದಿಂದ ಕಾಯುತ್ತಲೇ ಇವೆ. ಕಾದು ಕಾದು ಬಿಸಿಯೇರಿದೆ. ಈಗ ಹೊರಗೆಡಬೇಕು ಅಥವಾ ನುಂಗಬೇಕು. ಹಾಗೆಯೇ ತಣ್ಣಗಾಗುವ ಬಗೆಯೇನಾದರೂ ಇದೆಯಾ?
ನೋಡುಗರ ಕಣ್ಣಲ್ಲಿ ನಾನೊಂದು ಪರಮ ಶಾಂತಿ. ಆದರೆ ಅದು ನನ್ನೊಳಗೆ ಬರೀ ಭ್ರಾಂತಿ. ಒಳಗೆ ಪದೇ ಪದೇ ಪ್ರತಿಧ್ವನಿಸುತ್ತಿರುವ ಸದ್ದುಗಳ ಸೊಲ್ಲಡಗಿಸಿ ಸುಮ್ಮನಿರಿಸಲು ಹೇಗಾದೀತು? ಆಪ್ತ ಸಮಾಲೋಚನೆಗೆ ಬಂದವರು ಇದನ್ನು ಹೇಳಿದರೆ, “ಪದೇ ಪದೇ ಆಲೋಚನೆಗಳು ಬರುತ್ತಿದ್ದರೆ ಅದನ್ನು ಚಿಂತಾಚಕ್ರ ಅಥವಾ ಡಿumiಟಿಚಿಣioಟಿ ಎನ್ನುತ್ತೇವೆ. ಅದರಿಂದ ನೀವು ಹೊರಗೆ ಬರಬೇಕು” ಎಂದು ಎಂತದ್ದೋ ಒಂದಷ್ಟು ಸಲಹೆ ಸೂಚನೆಗಳನ್ನು ಕೊಟ್ಟು ಕಳುಹಿಸುತ್ತಿದ್ದೆ. ಆದರೆ ನನಗೆ ನಾನು ಎಂತದ್ದೋ ಒಂದಷ್ಟು ಸಲಹೆ ಸೂಚನೆಗಳನ್ನು ಕೊಟ್ಟುಕೊಳ್ಳಲು ಆಗದು.
ಸದ್ದಿಲ್ಲದ ಹಗಲಲ್ಲಿ, ಸದ್ದಡಗಿದಾಗ ರಾತ್ರಿಯಲ್ಲಿ ಹಳೆಯ ಮಾತುಕತೆಗಳು, ತಪುö್ಪಗಳು, ಬೇಸರಗಳು, ಪಶ್ಚಾತ್ತಾಪಗಳು ಮತ್ತು ವೈಫಲ್ಯಗಳು ಹಿಂದೆ ಹಿಂದೆಯೇ ಕಡಲ ತಡಿಗೆ ಬಂದಪ್ಪಳಿಸುವ ತಡೆಯಲಾಗದ ಅಲೆಗಳಾಗಿರುತ್ತವೆ. ಬೆಳಗಾದಾಗ ಗತ್ಯಂತರವಿಲ್ಲದೇ ಮಾಡುವ ಗದ್ದಲದಲ್ಲಿ ರಾತ್ರಿಗಾಗಿ ಕಾಯುತ್ತಾ ಒಳಗವಿತಿರುವ ಹೆಗ್ಗಣಗಳಂತೆ, ಜಿರಳೆಗಳಂತೆ ಅದೆಲ್ಲೋ ಬಿದ್ದಿರುತ್ತವೆ. ರಾತ್ರಿಯಾದರೆ ಸಾಕು ಮೆದುಳೆಂಬ ಒಡಕಲು ಪ್ರೊಜೆಕ್ಟರ್ ತನ್ನ ಮಾಸಲು ಸಿನಿಮಾವನ್ನು ತಂತಾನೆ ತೋರಿಸಲಾರಂಭಿಸುತ್ತವೆ.
ಅವರಿಗೆ ಇವರಿಗೆ ನಾನು ಹೇಳುವುದು ಅದೆಷ್ಟು ಕಪಟತನದ್ದು!
‘ಇದು trap of overthinking. ನೀವು ಹೊರಗೆ ಬರಬೇಕು.’
ನನಗೇ ಅವನ್ನು ನೋಡಿಕೊಳ್ಳಲು ಆಗಿಲ್ಲ. ನೋಡಿಕೊಳ್ಳಲು ಆಗಿಲ್ಲ ಎನ್ನುವುದಕ್ಕಿಂತ ನೋಡಿಕೊಳ್ಳಲು ಭಯ. ನನಗೆ ನನ್ನ ಮೇಲೆಯೇ ಜಿಗುಪ್ಸೆ ಬಂದುಬಿಟ್ಟೀತೆAಬ ಭಯ. ಆದರೆ ನೋಡಿಕೊಂಡರೆ ಬಾಧೆ ನಿವಾರಣೆಯಾಗಬಹುದು. ಚಿಂತಾಚಕ್ರ ತಿರುಗುತ್ತಿದ್ದಂತೆ, ಬಹುಕಾಲ ತಿರುಗುತ್ತಲೇ ಇದ್ದಂತೆ ಸವೆಯುವುದು. ಆ ಸವಕಳಿ ಚಿಂತಾಚಕ್ರವನ್ನು ಇಲ್ಲವಾಗಿಸದು. ಆದರೆ ಅದು ಸುತ್ತಲು ಮಧ್ಯದ ಕೀಲಾಗಿರುವ ನನ್ನ ಬಳಲಿಸುವುದು.
ಆ ಬಳಲಿಕೆಯೇ ನನ್ನ ವಯಸ್ಸಿಗಿಂತ ಹೆಚ್ಚು ಆಯಸ್ಸಾದಂತೆ ಕಾಣಿಸುವುದು. ಇರುವುದಕ್ಕಿಂತ ದೇಹ ಭಾರವಾಗಿರುವುದು.
ಹೌದಲ್ಲಾ, ಏರುತ್ತಲೋ, ಇಳಿಯುತ್ತಲೋ ಹೆಣಗಾಡುವ ಬದಲು ಕುಳಿತಾದ ಅಂದೆತದ್ದೋ ಪ್ರಶಾಂತತೆ ಒದಗಿದೆ ಇಂದು! ನನಗೆ ನಾನೇ ಹಳೆಯ ಸ್ನೇಹಿತನಾಗಿ ಕುಳಿತುಕೊಂಡು ನನ್ನದೇ ಮಾತುಗಳಿಗೆ ನಾನೇ ಕಿವಿಯಾಗುವ ಸರತಿ ಇಂದು ಒದಗಿತೇ?
ನನಗೆ ನಾನೇ ಹೇಳಿಕೊಳ್ಳುವುದು ಪರಕೀಯವೆನ್ನಿಸಿದರೂ ಒಂದಿಷ್ಟು ಉಸಿರಾಡಲು ಸರಾಗವೆನಿಸಿದೆ. ಕೈ ಮುಷ್ಟಿಗಟ್ಟಿದರೂ ಒಳಗೇ ಸಡಿಲವಾಯಿತು. ಮಡಿಸಿದ ಮೊಣಕೈ ತೊಡೆಯ ಮೇಲೆ ಒತ್ತುವುದನ್ನು ನಿಲ್ಲಿಸಿ ಹಗುರವಾಗಿ ಹತ್ತಿಯಂತೆ ಊರಿತು. ಮಧ್ಯಾಹ್ನದಲ್ಲೂ ತಂಗಾಳಿಯು ಮುಖಕ್ಕೆ ಮುತ್ತಿಡತೊಡಗಿತು.
ನಾಳೆ ಈ ಚಿಂತಾಚಕ್ರ ಮತ್ತೆ ತಿರುಗಣಿಯಾಗಬಹುದೇನೋ. ಆದರೆ ಚಿಂತೆಗಳ ನಡುನಡುವೆ ಒಂದಿಷ್ಟು ಉಸಿರುತೆಗೆದುಕೊಳ್ಳಲು ಸಾಧ್ಯವಾಗಿದ್ದು, ಏರುವುದನ್ನು, ಇಳಿಯುವುದನ್ನು ಬಿಟ್ಟು ಈ ಮೆಟ್ಟಿಲುಗಳ ಮೇಲೆ ಕೂತಿದ್ದಕ್ಕೆ.
‘ಹೌದು ಕಣೋ ಆತ್ಮಾ, ಹೌದು!’

ಅಂತರಂಗ
ಡಾ. ಆತ್ಮಾರಾಮನ ಆತ್ಮನಿವೇದನೆ ; ಒಳಗನ್ನಡಿಯಲ್ಲಿ ಮೌನದ ಮುಖ
~ಯೋಗೇಶ್ ಮಾಸ್ಟರ್, ಚಿಂತಕರು
ಆಪ್ತ ಸಮಾಲೋಚಕ ಮತ್ತು ಮನೋವೈದ್ಯ
ಹಾಗಂತಿರುವ ನನ್ನ ಮನೆಯ ಮುಂದಿನ ನನ್ನ ಪರಿಚಯ. ಅದನ್ನೇ ನಾನೆಂದು ತಿಳಿದಿರುವ ಹೊರಗಿನವರಿಗೆಲ್ಲಾ ನನ್ನೊಳಗಿರುವ ಅಪರಿಚಿತನ ಹೇಗೂ ಕಾಣಲಾಗದು.
ಲೋಕ ಕಾಣುವ ಅಥವಾ ನಾನು ತೋರುವ ಮುಖದ ಮುಸುಕನ್ನು ಸರಿಸಿ ಇಣುಕುವಷ್ಟು ಯಾರಿಗಾದರೂ ಅದೆಷ್ಟು ಬಿಡುವಿರುವುದು! ಪರದೆಯ ಮೇಲಿನ ಡಾ. ಆತ್ಮಾರಾಮನ ನೆರಳಿನಾಟವನ್ನು ಮೆಚ್ಚುವರು, ಹೊಗಳುವರು, ತೆಗಳುವರು, ತಿರಸ್ಕರಿಸುವರು; ಅವರವರ ಕಣ್ಣುಗಳ ಅಭಿರುಚಿಗೆ ತಕ್ಕಂತೆ.
ಪರರ ರುಚಿಗೆ ಎಟಕುವುದು ಚಹರೆಗಳೇ ತಾನೇ! ಅವರ ಕಣ್ಣುಗಳಿಂದಲೇ ನನ್ನ ನಾನು ಕಂಡುಕೊಳ್ಳಲು ಅಥವಾ ಕಾಣಿಸಿಕೊಳ್ಳಲು ಸಾಕಾಗಿ ನನ್ನ ಕಣ್ಣುಗಳು ಮುಚ್ಚಿಕೊಂಡವು. ಅದೆಷ್ಟೋ ಹೊತ್ತು ಹಾಗಿದ್ದೆನೋ!
ಚಹರೆಗಳ ನೆರಳುಗಳನ್ನು ನುಂಗಿಕೊAಡ ಕಣ್ಣೊಳಗಿನ ಕತ್ತಲೆಯಲ್ಲಿ ಬೆತ್ತಲೆಯಾಗಿರುವುದು ಸುಖ. ಅದು ನಿರಾಳತೆಯ ಸುಖ. ತರಾವರಿ ತೊಡುಗೆಗಳ ತೂಕವನಿಳಿಸಿಕೊಂಡ ನಿರಾತಂಕದ ನೆಮ್ಮದಿ. ಕತ್ತಲು; ಅದೆಷ್ಟು ಆಳ! ಗೂಢತೆಗಳ ಮೇಳವದೆಷ್ಟಿದ್ದರೂ ತೋರ್ಪಡಿಸಿಕೊಳ್ಳುವ ಕಾತುರವಿಲ್ಲದ ನಿರಹಂಕಾರದ ನಿರಾಳತೆ!
ಬೆಳಕಿನದೇ ಸಮಸ್ಯೆ. ಅದರಲ್ಲದೆಷ್ಟು ಬಣ್ಣಗಳು, ಬಣ್ಣನೆಗಳು. ವ್ಯತ್ಯಾಸಗಳು, ವ್ಯತ್ಯಯಗಳು. ಸಮೀಕರಣಗಳು, ಅಸಮಾನತೆಗಳು. ಉಪಮೆಗಳು, ಉದಾಹರಣೆಗಳು. ಸಾಧಾರಣಗಳು, ಅಸಾಧರಣಗಳು. ಅಸೂಯೆಗಳು, ಆಯಾಸಗಳು. ಕತ್ತಲು ನೆಮ್ಮದಿ. ಮುಚ್ಚಿರುವ ಕಣ್ಣೊಳಗಿನ ಕತ್ತಲಿನಲ್ಲಿ ಕಾಣತೊಡಗಿದ ನನ್ನ ಬಿಂಬವನ್ನು ನೋಡುತ್ತಲೇ ಕುಳಿತುಬಿಟ್ಟೆ. ಹೌದಲ್ಲಾ, ಇಷ್ಟು ಕಾಲ ಮುಚ್ಚಿಟ್ಟಿದವರೇ ಈಗ ಬಿಚ್ಚಿಡುತ್ತಿದ್ದಾರೆ.
ಹೌದು, ಮನಸ್ಸೆಂಬುದೇ ಹಾಗೆ. ಅದು ತನಗೆ ತಾನೇ ತೊಂದರೆಯನ್ನು ಉಂಟುಮಾಡಿಕೊಳ್ಳುತ್ತದೆ. ತಾನೇ ಗೋಗರೆಯುತ್ತದೆ. ತಾನೇ ಸಹಾಯವನ್ನು ನಿರಾಕರಿಸುತ್ತದೆ. ತಾನೇ ಗೋಳಿಡುತ್ತದೆ. ತಾನೇ ಸಂತೈಸುತ್ತದೆ.
ತಿಕ್ಕಲು, ತಾನೇ ಹಾಳು ಮಾಡುವುದು, ತಾನೇ ಗೋಳಿಡುವುದು, ತಾನೇ ಸರಿ ಮಾಡುವುದು. ಈಗ ಸರಿಮಾಡಿಕೊಳ್ಳುವ ಮಗ್ಗುಲಿಗೆ ತಿರುಗಿಕೊಂಡಿದೆ. ಸರಿ ಹೋಗಿಬಿಡಲಿ.
ಸರಿ ಹೋಗುವುದೋ ಬಿಡುವುದೋ, ಸರಿಯಿಲ್ಲ, ಸರಿ ಮಾಡಬೇಕಾಗಿದೆ ಅಂತ ಗೊತ್ತಾಯಿತಲ್ಲಾ ಅಷ್ಟೇ ಸಾಕು.
ರೋಗವಿದೆ ಎಂಬ ಅರಿವು ಬಹುದೊಡ್ಡ ಉಪಶಮನ. ರೋಗವನ್ನೇ ಆರೋಗ್ಯವೆಂದು ಭಾವಿಸಿದ್ದು, ಈಗ ರೋಗ ಎಂದು ತಿಳಿಯಿತಲ್ಲಾ, ಅದೇ ಗುಣಮುಖವಾಗುವ ಮುನ್ಸೂಚನೆ.
ಇಷ್ಟೂ ದಿನಗಳ ಕಾಲ ಕನ್ನಡಿಯೊಳಗೆ ಮುಖ ನೋಡಿಕೊಳ್ಳುತ್ತಿದ್ದದ್ದು, ಇತರರಿಗೆ ಹೇಗೆ ಕಾಣಿಸುತ್ತೇನೆ, ಹೇಗೆ ಕಾಣಿಸಬೇಕು ಎಂದು. ಆದರೆ ಇಂದು ಕತ್ತಲಿನ ಕನ್ನಡಿಯಲ್ಲಿ ಕಾಣುತ್ತಿರುವ ಮುಖದ ಒಳಗಿನ ಮೌನ ತನ್ನ ಗುರುತಿನ ಪರದೆಯನ್ನು ಹರಿಯುತ್ತಿದೆ. ಯಾವ ಅಡಿಗಿದ್ದ ಮೌನ ನನ್ನಾತ್ಮದ ಕವಚವಾಗಿತ್ತೋ ಅದು ಕಾರಾಗೃಹವೆನಿಸಿ ಉಸಿರುಕಟ್ಟಿಸಿದ್ದು ಒಳ್ಳೆಯದೇ ಆಯಿತು.
ಮೌನ ದನಿಯಾಗುತ್ತಿದೆ. ದನಿ ಬನಿಯಾಗುತ್ತಿದೆ.
ಹಾಗಾಗಿಯೇ ಬೆಳಕಿನಲ್ಲಿ ವಿವಿಧ ಬಣ್ಣಗಳನ್ನು ಹಚ್ಚಿ ಬಣ್ಣಿಸಿದ್ದ ಎಲ್ಲಾ ಸಂಬAಧಗಳು, ಸಂಗತಿಗಳು, ಸಂವಹನಗಳು, ಸಂಘರ್ಷಗಳು ಈಗ ನೆನಪಿನ ನೆರಳುಗಳಾಗಿ ಆಳವಾದ ಕತ್ತಲಲ್ಲಿ ಬಣ್ಣ, ಬಣ್ಣನೆಗಳನ್ನು ಕಳೆದುಕೊಂಡಿವೆ.
ಅವರಿವರ ಮನಸ್ಸುಗಳ ಮಸುಕು ಮಾಡುವ ಮುಸುಕುಗಳ ತೆಗೆಯಲು ಸಹಕರಿಸುತ್ತಿದ್ದವನಿಗೆ ಸ್ವಸಹಾಯ ಮಾಡಿಕೊಳ್ಳಲು ಅದೇ ಮನಸ್ಸು ಮನಸ್ಸು ಮಾಡಿದೆ. ಆಗಲಿ, ಅದೂ ಆಗಿ ಹೋಗಲಿ.
ಮನೋವೈದ್ಯ ತನ್ನೊಳಗಿನ ರೋಗವನ್ನು ಪತ್ತೆ ಮಾಡಿಕೊಳ್ಳಲಿ. ಆಪ್ತ ಸಮಾಲೋಚಕ ತನ್ನಿರುವಿಗೆ, ತನ್ನಾಳಕೆ ಒಂದಿಷ್ಟು ಕಾಲ ಆಪ್ತನಾಗಿರುವ ಅವಕಾಶವನ್ನು ದಕ್ಕಿಸಿಕೊಳ್ಳಲಿ. ಮೌನವನ್ನು ಓದುವ ಓರಗೆಯವರಿದ್ದಾರೆ. ಓದಲಿ.
ವೈದ್ಯನೊಬ್ಬ ತಾನು ರೋಗಿಯಾಗಿರಲಿಲ್ಲ, ಅಥವಾ ತನಗೆ ರೋಗ ಬರುವುದಿಲ್ಲ ಎನ್ನುವುದು ಆತ್ಮವಂಚನೆ. ತನಗೆ ತಾನು ವಂಚಿಸಿಕೊಳ್ಳುವವನು ಜಗತ್ತಿನ ಯಾರೊಂದಿಗೆ ವಿಶ್ವಾಸವನ್ನು ಸಂಚಯ ಮಾಡಿಯಾನು!
ಮತ್ತೆ ಸಿಕ್ಕಿದನವನು ಮೌನದಲಿ
ಕಳೆದಿದ್ದವನು ಗದ್ದಲದಲಿ
ಗಾಯಗಳು ಮರೆತಿವೆ
ನೋವಿಲ್ಲದ ಕಲೆಗಳ ಹಿಂದೆ
ಪ್ರತಿ ಉಸಿರು ಆಸೆಗಳ ಬಸಿರು
ಹೆರಲಾಗದೆ ಘನವಾದ ಕಣ್ಣೀರು
ಕರಗುವುದೊಮ್ಮೆ ಹೆಪುö್ಪಗಟ್ಟಿದ ಕಾರ್ಮೋಡ
ಸುರಿವುದಲ್ಲಿ ಒಳಗಣ್ಣಿಂದ ಮಳೆಯು ನೋಡ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ದಿಮಾಗಿ ನಕ್ಸಲ್-ನಗರ ನಕ್ಸಲ್
~ರಹಮತ್ ತರೀಕೆರೆ, ಚಿಂತಕರು
ಕಾರ್ನಾಡರಲ್ಲಿ ನನಗೆ ಮೊದಲಿಂದಲೂ ವೈಯಕ್ತಿಕ ಸಂಪರ್ಕ ಇರಲಿಲ್ಲ. ಅನಂತಮೂರ್ತಿ ಅವರಂತೆ ಅವರು ಕಿರಿಯ ಲೇಖಕರ ಜತೆ ನಂಟಿರಿಸಿಕೊಂಡವರಲ್ಲ. ಯಾರಿಗಾದರೂ ಮುನ್ನುಡಿ ಬರೆದಿದ್ದೂ ನನಗೆ ತಿಳಿದಿಲ್ಲ. ತಾವಾಯಿತು ತಮ್ಮ ಬರೆಹ, ಸಿನಿಮಾ ಆಯಿತು ಎಂದಿದ್ದವರು. ಮಹಾರಾಷ್ಟ್ರದಲ್ಲಿ ಹುಟ್ಟಿ, ಜೀವಿತದ ಬಹುಕಾಲ ಕರ್ನಾಟಕದ ಹೊರಗಿದ್ದ ಅವರು, ಕರ್ನಾಟಕದ ಸಾರ್ವಜನಿಕ ಕಾರ್ಯಕ್ರಮಗಳಲ್ಲೂ ಹೆಚ್ಚು ಕಾಣಿಸಿದವರಲ್ಲ. ಸಮಕಾಲೀನರಾದ ತೇಜಸ್ವಿ ಲಂಕೇಶ್ ಅನಂತಮೂರ್ತಿ ಅವರಂತೆ ಪಬ್ಲಿಕ್ ಇಂಟಲೆಕ್ಚುವಲ್ ಕೆಲಸವನ್ನು ಮೈಮೇಲೆ ಹಾಕಿಕೊಂಡು, ಕರ್ನಾಟಕದ ಕಷ್ಟದ ದಿನಗಳಲ್ಲಿ ತಮ್ಮ ಮಾತು ಭಾಷಣ ಬರೆಹಗಳಿಂದ ಜನಾಭಿಪ್ರಾಯ ರೂಪಿಸಿದವರಲ್ಲ.
ಹೀಗಿದ್ದ ಕಾರ್ನಾಡರು ಬಾಳಿನ ಕೊನೆಯ ವರ್ಷಗಳಲ್ಲಿ ಆಶ್ಚರ್ಯಕರವಾಗಿ ಬದಲಾದರು; ಸಾರ್ವಜನಿಕ ಮಹತ್ವದ ಪ್ರಸಂಗಗಳಲ್ಲಿ ಮಾತಾಡಿದರು. ಹಠಬಿದ್ದಂತೆ ಬೀದಿಗಿಳಿದರು. ಈ ರೂಪಾಂತರಕ್ಕೆ ಕಾರಣ, ಪ್ರಭುತ್ವಗಳು ರಾಜಕೀಯ ಸೈದ್ದಾಂತಿಕ ಭಿನ್ನಮತಗಳನ್ನು ದಮನಿಸುವ ನಡೆಗಳಿರಬಹುದು; ಅನಂತಮೂರ್ತಿ ತೇಜಸ್ವಿ ಲಂಕೇಶ್ ತೀರಿಕೊಂಡ ಬಳಿಕ, ಉಂಟಾದ ರಿಕ್ತತೆ ಅವರನ್ನು ಈ ಹೊಸ ಪಾತ್ರ ನಿರ್ವಹಿಸುವಂತೆ ಆಹ್ವಾನಿಸಿರಬಹುದು. ಅವರು ತಮ್ಮ ಮಾತು, ಕೃತಿ, ಕ್ರಿಯೆಗಳಲ್ಲಿ ಭಾರತವನ್ನು ಆವರಿಸುತ್ತಿರುವ ಮತೀಯತೆ ಕುರಿತು ವ್ಯಗ್ರರಾಗಿದ್ದರು.
ಅವರು ಮಾಡಿದ ಸಾರ್ವಜನಿಕ ಪ್ರತಿರೋಧದ ಪ್ರಕರಣಗಳನ್ನು ಗಮನಿಸಬೇಕು. ಬಾಬರಿ ಮಸೀದಿಯ ಧ್ವಂಸವನ್ನು ವಿರೋಧಿಸಿದ್ದು; ನೈಪಾಲರ ಬಲಪಂಥೀಯವಾದ ಬೆಂಬಲಿಸುವ ನಿಲುವನ್ನು ಖಂಡಿಸಿದ್ದು; ಬಾಬಾಬುಡನಗಿರಿ ಚಳುವಳಿಯಲ್ಲಿ ಭಾಗವಹಿಸಿದ್ದು; ಟಿಪ್ಪು ನೆನಪಿನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು; ಟಿಪ್ಪು ಕುರಿತು ನಾಟಕ ಬರೆದಿದ್ದು; ಎಂ. ಎಫ್. ಹುಸೇನರ ಸೃಜನಶೀಲತೆ ಪರವಾಗಿ ನಿಂತಿದ್ದು; ಗೋರಕ್ಷಣೆ ಹೆಸರಲ್ಲಿ ನಡೆಯುತ್ತಿರುವ ಉಪಟಳ ವಿರೋಧಿಸಿ `ನಮ್ಮ ಆಹಾರ ನಮ್ಮ ಹಕ್ಕು’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು. ಇಲ್ಲಿನ ಕೊನೆಯ ಕಾರ್ಯಕ್ರಮದಲ್ಲಿ ಅವರೊಟ್ಟಿಗೆ ಅನಂತಮೂರ್ತಿಯವರೂ ಇದ್ದರು. ಭಾರತದಲ್ಲಿ ಇಬ್ಬರು ಜ್ಞಾನಪೀಠ ಲೇಖಕರು ಇಂತಹದೊಂದು ಸಾರ್ವಜನಿಕ ಪ್ರತಿರೋಧದ ಕಾರ್ಯಕ್ರಮದಲ್ಲಿ ಒಟ್ಟಿಗೆ ಭಾಗವಹಿಸಿದ್ದು ಅಪೂರ್ವ ಸಂಗತಿ.
ನನಗೆ ಅವರ ಜತೆ ಮೊದಲ ಮುಖಾಬಿಲೆ ಆಗಿದ್ದು ಬಾಬಾಬುಡನಗಿರಿಗೆ ಮಾಡಿದ ಪಯಣದಲ್ಲಿ. ಸೂಫಿಗಳ ಮೇಲೆ ತುಸು ಅಧ್ಯಯನ ಮಾಡಿದವನೆಂದು ನನ್ನನ್ನು ಅವರೊಟ್ಟಿಗೆ ಕೂರಿಸಲಾಗಿತ್ತು. ಅವರ ಗಂಭೀರ ಸ್ವಭಾವದ ಬಗ್ಗೆ ತಿಳಿದಿದ್ದ ನಾನು, ಅವರಾಗಿ ಏನಾದರೂ ಕೇಳಿದರೆ ಮಾತ್ರ ಹೇಳಬೇಕೆಂದು, ಸಹಪಯಣದ ಖುಶಿಯನ್ನು ಅನುಭವಿಸುತ್ತ ಜತೆಗೆ ಕೂತಿದ್ದೆ. ಗಿರಿಯನ್ನು ವಾಹನ ಹತ್ತುವಾಗ, ನೆತ್ತಿಮೇಲಣ ಶಿಖರಗಳನ್ನೂ ಕೆಳಗಿನ ಕಣಿವೆಗಳನ್ನೂ ನೋಡುತ್ತ ಕಾರ್ನಾಡರು `ಓಹ್ ಎಷ್ಟೊಂದು ಸುಂದರವಾಗಿದೆಯಲ್ಲ’’ ಎಂದು ಉದ್ಗರಿಸುತ್ತ ಮಗುವಿನಂತೆ ಪುಟಿಯುತ್ತಿದ್ದರು.
ಅವರೊಬ್ಬ ಸೆಲೆಬ್ರಿಟಿಯಾದರೂ ಸರಳವ್ಯಕ್ತಿ. ಅಭಿನಯ ಅವರ ವೃತ್ತಿಯಾದರೂ ವ್ಯಕ್ತಿಯಾಗಿ ತೋರಿಕೆಯೇ ಇಲ್ಲದ ನೇರಗುಣದವರು. ಗೋಕರ್ಣದಲ್ಲಿ ನಡೆದ ಗೌರೀಶ ಕಾಯ್ಕಿಣಿಯವರ ಶತಮಾನೋತ್ಸವ ಕಾರ್ಯಕ್ರಮದಲ್ಲಿ ನಮ್ಮನ್ನು ತೋಟದ ಮನೆಯೊಂದರಲ್ಲಿ ಉಳಿಸಲಾಗಿತ್ತು. ಕಾರ್ನಾಡರು ನನಗಿಂತಲೂ ವೈದ್ಯೆಯಾದ ನನ್ನ ಮಗಳ ಜತೆ ಹೆಚ್ಚು ಮಾತನಾಡಿದರು. ಆದಿನ ನಾನು ಅವರ `ಆಡಾಡ್ತಾ ಆಯುಷ್ಯ’ ಒಳಗೊಂಡಂತೆ (ಬೆರಗು ಹುಟ್ಟಿಸುವ ಭಾಷೆಯುಳ್ಳ ವಿಶಿಷ್ಟ ಗದ್ಯಶೈಲಿಯ ಕೃತಿಯಿದು) ಕನ್ನಡದ ಆತ್ಮಕತೆಗಳ ಬಗ್ಗೆ ಉಪನ್ಯಾಸ ಮಾಡಿದೆ. ಬಸಳೆಸೊಪ್ಪಿನ ಹೊರೆಯನ್ನು ಅವರ ಕೈಯಿಂದ ಉಡುಗೊರೆ ಕೊಡಿಸಲಾಯಿತು. ಉಪನ್ಯಾಸದ ಬಳಿಕ ಕಾರ್ನಾಡರು ಕೇಳಿದರು: “ಭಾರತದ ಮೊಟ್ಟಮೊದಲ ಆತ್ಮಕಥೆ `ಅರ್ಧಕಥಾನಕ’ ಓದಿದ್ದೀರಾ?” “ಇಲ್ಲ” “ನೀವು ಓದಲೇಬೇಕು. ಅಪರೂಪದ ಪುಸ್ತಕ. 16ನೇ ಶತಮಾನದ್ದು’’. ಬೆಂಗಳೂರಿಗೆ ಹೋದೊಡನೆ ನೆರಳಚ್ಚನ್ನು ಕಳಿಸಿಕೊಟ್ಟರು. ವ್ಯವಹಾರ ಪ್ರಜ್ಞೆಯಿಲ್ಲದವನೂ ಕಾವ್ಯಪ್ರೇಮಿಯೂ ಆದ ಜೈನ ವ್ಯಾಪಾರಿಯೊಬ್ಬನ ರೋಚಕ ಅನುಭವಗಳ ಕಥನವದು.
ಹೀಗೆ ಸಣ್ಣಗೆ ಆರಂಭವಾದ ಪರಿಚಯ `ಅಮೀರಬಾಯಿ ಕರ್ನಾಟಕಿ’ ಪುಸ್ತಕದ ಸನ್ನಿವೇಶದಲ್ಲಿ ಧಕ್ಕೆಗೊಳಗಾಯಿತು. ನಾನು ಅಮೀರಬಾಯಿ ಸಂಶೋಧನೆಗೆಂದು ಪುಣೆ ಮುಂಬೈ ತಿರುಗಾಡುವಾಗ, ಮಹಾರಾಷ್ಟ್ರದಲ್ಲಿ ಕಾರ್ನಾಡರಿಗೆ ಸಿನಿಮಾ ಮತ್ತು ಸಾಹಿತ್ಯ ಕ್ಷೇತ್ರದಲ್ಲಿರುವ ಮರ್ಯಾದೆಯನ್ನು ಗಮನಿಸಿದ್ದೆ. ಮರಾಠಿ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾಡಿದ ದಿಟ್ಟ ಭಾಷಣವು-ಅದರಲ್ಲಿ ರಾಜಕೀಯ ಪಕ್ಷಗಳು ಸೈನೀಕರಣಗೊಳ್ಳುವುದರ ಬಗ್ಗೆ ಕಟುವಾದ ವಿಮರ್ಶೆಯಿದೆ- ಅಲ್ಲಿನ ಲೇಖಕರು ನೆನಪಿಟ್ಟಿದ್ದರು. ಕನ್ನಡ-ಮರಾಠಿ ಸಾಂಸ್ಕøತಿಕ ಬಾಂಧವ್ಯದ ಕೊಂಡಿಯಾಗಿದ್ದ ಅಮೀರಬಾಯಿ ಕುರಿತ ಹೊತ್ತಗೆಯನ್ನು ಅವರೇ ಬಿಡುಗಡೆ ಮಾಡಿದರೆ ಚೆನ್ನವೆನಿಸಿತು. ಹೇಗೂ `ಸಾಹಿತ್ಯ ಸಂಭ್ರಮ’ದ ಕಾರ್ಯಕ್ರಮಕ್ಕಾಗಿ ದಿನ ಮೊದಲೇ ಧಾರವಾಡಕ್ಕೆ ಬರುತ್ತಿದ್ದರು. ಹಿಂದಿನ ದಿನ ಸಂಜೆ ಬಿಡುಗಡೆ ಮಾಡಲು ಸಾಧ್ಯವೇ ಎಂದು ಕೇಳಿದೆ. ಕೂಡಲೇ ಒಪ್ಪಿದರು.
ಆದರೆ ಸಾಹಿತ್ಯ ಸಂಭ್ರಮ ಕಾರ್ಯಕ್ರಮದ ಸ್ವರೂಪದ ಬಗ್ಗೆ ಭಿನ್ನಮತ ವ್ಯಕ್ತಪಡಿಸಿ ನಾನು ಭಾಗವಹಿಸದೆ ಹೊರಗುಳಿದೆ. ಕಾರ್ನಾಡರು ಕರೆ ಮಾಡಿ “ನೀವು ಸಂಭ್ರಮಕ್ಕೆ ಬರಲು ನಿರಾಕರಿಸಿದರಂತೆ. ನಿಜವೇ?’’ ಎಂದು ಕೇಳಿದರು. ಹೌದೆಂದೆ. `ಹಾಗಿದ್ದಲ್ಲಿ ನಿಮ್ಮ ಕಾರ್ಯಕ್ರಮಕ್ಕೆ ಬರಲಾರೆ, ಕ್ಷಮಿಸಿ’ ಎಂದರು. `ಆಗಲಿ’ ಎಂದೆ. ಅವರಿಗೆ ತಾನು ಹಾಗೆ ಮಾಡಿದ್ದು ಸರಿಯಲ್ಲ ಅನಿಸಿರಬೇಕು. ಧಾರವಾಡದಲ್ಲಿರುವ ತಮ್ಮ ಒಡನಾಡಿ ಸುರೇಶ ಕುಲಕರ್ಣಿಯವರೊಟ್ಟಿಗೆ ತಮ್ಮ ಚಡಪಡಿಕೆ ಹಂಚಿಕೊಂಡರಂತೆ. ಆದರೆ ನಾನು ಕಾರ್ಯಕ್ರಮ ಮುಗಿದ ಬಳಿಕ ಪುಸ್ತಕದ ಗೌರವಪ್ರತಿ ಕಳಿಸಿಕೊಟ್ಟೆ. ಚೆನ್ನಾಗಿ ಬಂದಿದೆ ಎಂದು ಪತ್ರ ಬರೆದರು. ಅವರು ಆ ಘಟನೆಯನ್ನು ಮನಸ್ಸಿನಲ್ಲಿ ಇಟ್ಟುಕೊಂಡಂತೆ ಕಾಣಲಿಲ್ಲ. ತಮ್ಮ ಪರಿಚಿತರು ಯಾರಾದರೂ ಹಂಪಿ ನೋಡಬಯಸಿದರೆ, ನನ್ನ ಸಲಹೆ ಪಡೆಯಲು ಹೇಳುತ್ತಿದ್ದರು. ಒಮ್ಮೆ ಅವರ ನಾಟಕಗಳಲ್ಲಿ ನಟಿಸುವ ಬಂಗಾಳದ ನಟಿ ಹಂಪಿಯಲ್ಲಿ ಹಣ ಪಾಸ್ಪೋರ್ಟುಳ್ಳ ಪರ್ಸನ್ನು ಕಳೆದುಕೊಂಡರು. ಕಾರ್ನಾಡರು ಕರೆಮಾಡಿ ಆಕೆಗೆ ಬೆಂಗಳೂರಿನ ತನಕ ಬರಲು ಸಹಾಯ ಮಾಡುವುದು ಸಾಧ್ಯವೇ ಎಂದು ಕೇಳಿದರು.
ಸಂವಾದಕ್ಕೆ ಸದರವಾಗಿ ಸಿಗುವ ಲೇಖಕರಲ್ಲದ ಗಿರೀಶ್, ಬಾಳಿನ ಕೊನೆಯ ದಿನಗಳಲ್ಲಿ ತಮ್ಮ ಲಾಗಾಯ್ತಿನ ಸ್ವಭಾವಕ್ಕೆ ಪ್ರತಿಯಾಗಿ, ಸಾಂಸ್ಕøತಿಕ ನಾಯಕತ್ವದ ದನಿ ಮೊಳಗಿಸಿದರು. ತಮಗೆ ತಪ್ಪೆಂದು ಕಂಡ ವಿಷಯಗಳಲ್ಲಿ ಪರಿಣಾಮ ಲೆಕ್ಕಿಸದೆ ದಿಟ್ಟತನದ ನಿಲುವು ತೆಗೆದುಕೊಂಡರು. ತಮ್ಮ ತಾತ್ವಿಕ ರಾಜಕೀಯ ನಿಲುವಿಗೆ ವಿರುದ್ಧವಿರುವ ದೊಡ್ಡ ಸಾಧಕರನ್ನೂ ಲೆಕ್ಕಿಸದೆ ಶಾಬ್ದಿಕ ಹಿಂಸೆಗೆ ಗುರಿಪಡಿಸುವ ಈಚಿನ ಪದ್ಧತಿಗೆ ಬಲಿಯೂ ಆದರು. ಗೌರಿಲಂಕೇಶ್ ಸ್ಮರಣ ಕಾರ್ಯಕ್ರಮಕ್ಕೆ `ನಾನೂ ನಗರ ನಕ್ಸಲ್’ ಎಂದು ಕೊರಳಿಗೆ ಬೋರ್ಡು ಸಿಕ್ಕಿಸಿಕೊಂಡು ಬಂದ ಸನ್ನಿವೇಶ ನೆನಪಾಗುತ್ತಿದೆ. ಅದು ತೀರಾ ನಾಟಕೀಯವಾಗಿತ್ತು. ಆದರೆ ಅವರ ಸ್ಪಷ್ಟತೆ ಧೈರ್ಯ ಸಿಟ್ಟು ಹತಾಶೆ ಆಕ್ಟಿವಿಸಂಗಳ ಆತ್ಯಂತಿಕ ರೂಪಕವಾಗಿತ್ತು. ಆರೋಗ್ಯ ಸರಿಯಿರಲಿಲ್ಲ. ಕೈಯಲ್ಲಿ ಆಮ್ಲಜನಕದ ಸಿಲಿಂಡರನ್ನು ಹಿಡಿದಿದ್ದರು. ಅಪರಾಧಿಗಳ ಕೊರಳಿಗೆ ಫಲಕ ತೂಗುಹಾಕುವುದು ಕ್ರಮವಿದೆ. ಶಿಲುಬೆಗೇರಿದ ಕ್ರಿಸ್ತನ ಕೊರಳಿಗೂ `ನಜರೇತಿನ ಅರಸ’ ಎಂಬ ವ್ಯಂಗ್ಯದ ಫಲಕ ತೂಗಿಸಲಾಗಿತ್ತು. ಆದರೆ ಕಾರ್ನಾಡರು ಇದನ್ನು ಸ್ವತಃ ಧಾರಣಮಾಡಿದ್ದರು. `ವಿಚಾರ ಮಾಡುವುದು, ಪ್ರಭುತ್ವವನ್ನು ವಿಮರ್ಶಿಸುವುದು, ಮತಧರ್ಮದ ಹಿಂಸೆ ಖಂಡಿಸುವುದು ಅಪರಾಧವಾದರೆ ನಾನೂ ಅಪರಾಧಿ’ ಎಂಬ ನಾಟಕೀಯ ತಪ್ಪೊಪ್ಪಿಗೆಯನ್ನು ಅದು ಒಳಗೊಂಡಿತ್ತು. ಜನಪದ ಮಿತ್ ಮತ್ತು ಪುರಾಣಗಳನ್ನು ನಾಟಕಗಳಿಗೆ ದುಡಿಸಿಕೊಂಡ ಕಾರ್ನಾಡರು ನಾಗರಿಕ ಹಕ್ಕುಗಳ ವಿಷಯ ಬಂದರೆ, ಮುಕ್ತ ಸಮಾಜದ ಪರವಾದ ಆಕ್ಸಫರ್ಡ್ ಪದವೀಧರರೇ. ನಾಗರಿಕ ಸಮಾಜವೊಂದರಲ್ಲಿ ಸಹಜವಾಗಿ ಇರಬೇಕಾದ ಸ್ವಾತಂತ್ರ್ಯದ ಪರವಾಗಿ ಅವರು ಸದಾ ಆಲೋಚಿಸುತ್ತಿದ್ದರು. ಫಲಕದಲ್ಲಿರುವ ಬರೆಹವು ಸ್ವಹಸ್ತಾಕ್ಷರದಲ್ಲಿತ್ತು. ದೇಶದ ಸುದ್ದಿಯಾಗಬೇಕೆಂದೇ ಇಂಗ್ಲೀಶಿನಲ್ಲಿತ್ತು. ಅದರಲ್ಲಿ ದೇಶೀಭಾಷೆಯ ಲೇಖಕ ಎಂಬುದನ್ನು ದಾಖಲಿಸುವಂತೆ `ನಾನು ಕೂಡ’ ಎಂಬ ಎರಡು ಪದಗಳು ಕನ್ನಡದಲ್ಲಿದ್ದವು. ಉಸಿರ್ಗಟ್ಟಿಸುವ ಸನ್ನಿವೇಶಕ್ಕೆ ತುಡಿಯುವಂತೆ ಕೈಯಲ್ಲಿ ಆಕ್ಸಿಜನ್ ಸಿಲಿಂಡರಿತ್ತು.
ಅದೊಂದು ಅಭಿಮಾನ ಉಕ್ಕಿಸುವ ಮತ್ತು ಎದೆಕರಗಿಸುವ ಚಿತ್ರ; ಸಮಾಜದ ಹದುಳಕ್ಕಾಗಿ ತನ್ನ ಬೇನೆಯಲ್ಲೂ ಲೇಖಕ ರಿಸ್ಕ್ ತೆಗೆದುಕೊಳ್ಳುವ ಪ್ರತೀಕ. ಕಾರ್ನಾಡರಲ್ಲಿ ಲೆಕ್ಕಾಚಾರ ದ್ವಂದ್ವ ಇರಲಿಲ್ಲ. ಅಂತರಂಗಕ್ಕೆ ಸರಿಯೆನಿಸಿದ್ದನ್ನು ಹೇಳುವ-ಮಾಡುವ ಪ್ರಾಮಾಣಿಕತೆಯಿತ್ತು. ಇದು ಅವರ ಶವಸಂಸ್ಕಾರದಲ್ಲೂ ವ್ಯಕ್ತವಾಯಿತು. ಅವರು ಸತ್ತು ದೊಡ್ಡವರಾದವರು; ಅವರನ್ನು ಕೆಟ್ಟದಾಗಿ ನಡೆಸಿಕೊಂಡು ಬದುಕಿರುವ ನಾವು ಸಣ್ಣವರಾದೆವು.
ಸುದ್ದಿದಿನ.ಕಾಂ|ವಾಟ್ಸಾಪ್|9980346243


