ದಿನದ ಸುದ್ದಿ
“ರೈತರಲ್ಲಿ ಆತ್ಮಸ್ಥೈರ್ಯ ತುಂಬಲು ರೈತರೊಂದಿಗೊಂದು ದಿನ ಕಾರ್ಯಕ್ರಮ ಜಾರಿ” : ಕೃಷಿ ಸಚಿವ ಬಿ.ಸಿ. ಪಾಟೀಲ್
ಸುದ್ದಿದಿನ,ವಿಜಯಪುರ: ರೈತರ ಆತ್ಮಹತ್ಯೆ ತಡೆಯಲು ಹಾಗೂ ಅವರಲ್ಲಿ ಆತ್ಮಸ್ಥೈರ್ಯ ತುಂಬಲು ರೈತರ ಮನೆ ಬಾಗಿಲಿಗೆ ಸರ್ಕಾರವನ್ನು ಒಯ್ಯುವ ನಿಟ್ಟಿನಲ್ಲಿ ಸರ್ಕಾರವು ರೈತರೊಂದಿಗೆ ಒಂದು ದಿನದಂತಹ ಕಾರ್ಯಕ್ರಮವನ್ನು ಜಾರಿಗೊಳಿಸಿದೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ ಅವರು ಹೇಳಿದರು.
ಮುದ್ದೇಬಿಹಾಳ ತಾಲೂಕಿನ ಬಸರಕೋಡ ಗ್ರಾಮದಲ್ಲಿ ಇಂದು ರೈತರಿಗೊಂದು ದಿನ ಕಾರ್ಯಕ್ರಮದ ಅಂಗವಾಗಿ ಪ್ರಗತಿಪರ ರೈತರಾದ ಪವಾಡೆಪ್ಪ ವಡ್ಡರ ಅವರ ಜಮೀನು ಭೇಟಿ ,ಪರಿಶೀಲನೆ ನಂತರ ರೈತ ಸಿದ್ಧು ಮೇಟಿ ಅವರ ತೋಟದಲ್ಲಿ ಕೃಷಿ ಯಂತ್ರೋಪಕರಣಗಳ ಬಾಡಿಗೆ ಆಧಾರಿತ ಸೇವಾ ಕೇಂದ್ರದ ಉದ್ಘಾಟನಾ ಸಮಾರಂಭ ಹಾಗೂ ಪ್ರಗತಿಪರ ರೈತ ಹೇಮರೆಡ್ಡಿ ಭೇಟಿ ತೋಟದಲ್ಲಿ ಎಲೆ ಬಳ್ಳಿ ಹಾಗೂ ದ್ರಾಕ್ಷಿ ತೋಟಕ್ಕೆ ಭೇಟಿ ನೀಡಿ ಪರಿಶೀಲಿಸಿ ಮಾತನಾಡಿದ ಅವರು ಕಿಸಾನ್ ಸಮ್ಮಾನ ಯೋಜನೆಯಡಿ ನೂರಕ್ಕೆ ಶೇ.97 ರಷ್ಟು ಸಾಧನೆ ಮಾಡಿದ ಹಿನ್ನೆಲೆ ದೇಶಕ್ಕೆ ಕರ್ನಾಟಕ ರಾಜ್ಯ ಪ್ರಥಮ ಸ್ಥಾನ ಲಭಿಸಿರುವುದು ಹೆಮ್ಮೆ ಹಾಗೂ ಸಂತಸದ ಸಂಗತಿಯಾಗಿದೆ ಎಂದು ಹೇಳಿದರು.
ಕೃಷಿ ಕ್ಷೇತ್ರ ಹಾಗೂ ರೈತನನ್ನು ಸ್ವಾವಲಂಬಿಯಾಗಿ ಮಾಡಲು ಸರ್ಕಾರ ಬದ್ಧವಾಗಿರುವ ಈ ನಿಟ್ಟಿನಲ್ಲಿ ಗರಿಷ್ಠ ಸಬ್ಸಿಡಿ ಸಾಲ ಯೋಜನೆಗಳನ್ನು ರೂಪಿಸಿದೆ. ರೈತರು ಇದರ ಸದುಪಯೋಗ ಪಡಿಸಿಕೊಂಡು ತಮ್ಮ ಬದುಕನ್ನು ಹಸನಾಗಿಸಿಕೊಳ್ಳುವುದರೊಂದಿಗೆ ಆದರ್ಶ ರೈತ ಪ್ರಶಸ್ತಿ ಪುರಸ್ಕøತ ಪವಾಡೆಪ್ಪ ವಡ್ಡರ ರವರಂತೆ ಕೃಷಿಯಲ್ಲಿ ಪ್ರಗತಿ ಸಾಧಿಸಿ ಇತರರಿಗೂ ಮಾದರಿಯಾಗಬೇಕು ಎಂದು ಅವರು ಹೇಳಿದರು.
ರೈತರು ಸಾವಯವ ಸಮಗ್ರ ಕೃಷಿ ಅಳವಡಿಸಿಕೊಳ್ಳುವಂತೆ ಅವರು ಕರೆ ನೀಡಿ ಪವಾಡೆಪ್ಪ ವಡ್ಡರ ಅವರ ಜಮೀನಿನಲ್ಲಿ ಗೋ ಪೂಜೆ ಮಾಡಿ ನಾಟಿ ಕೋಳಿ, ಆಡು ಘಟಕಗಳು ಸೇರಿದಂತೆ ಬಾಳೆ ತೋಟ, ಎರೆ ಹುಳು ಗೊಬ್ಬರ ಘಟಕ, ಬೈಕ್ ಟ್ರಾಲಿ ಅವಿಷ್ಕಾರವನ್ನು. ಹಾಗೂ ಶೇಂಗಾ ಬೆಳೆಗೆ ಡ್ರಿಪ್ ನೀರಾವರಿ ಸೌಲಭ್ಯ ವಿಕ್ಷೀಸಿದ ಅವರು ನಂತರ 12 ಎಕರೆ ಜಮೀನಿನಲ್ಲಿ ಸಿದ್ಧುಮೇಟಿ ರೈತನ ಗೋಧಿ ಕಟಾವು ಯಂತ್ರವನ್ನು ಖುದ್ದಾಗಿ ತಾವೇ ಕಟಾಯಿಸಿ ಪ್ರೋತ್ಸಾಹಿಸಿ ಅದರಂತೆ ದ್ರಾಕ್ಷಿ ಎಲೆ ತೋಟ ವಿಕ್ಷಿಸಿ ಬೆಳೆ ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಆದರ್ಶ ರೈತ ಪ್ರಶಸ್ತಿ ಪುರಸ್ಕøತ, ಪ್ರಗತಿ ಪರ ರೈತ ಪವಾಡೆಪ್ಪ ವಡ್ಡರ ಅವರು ರೈತರೊಂದಿಗೊಂದು ದಿನ ಕಾರ್ಯಕ್ರಮದ ಅಂಗವಾಗಿ ಕೃಷಿ ಸಚಿವರ ಆಗಮನದಿಂದ ಸರ್ಕಾರವೇ ತಮ್ಮ ಮನೆ ಬಾಗಿಲಿಗೆ ಬಂದತಾಗಿದ್ದು, ತನ್ನ ಜೀವನ ಸಾರ್ಥಕವಾಯಿತು. ನನ್ನನ್ನು ಗುರುತಿಸಿ, ಪ್ರೋತ್ಸಾಹಿಸಿದ ಸರ್ಕಾರ ಹಾಗೂ ಸಚಿವರಿಗೆ ಧನ್ಯವಾದ ಅರ್ಪಿಸುತ್ತೇನೆ ಎಂದು ಭಾವುಕರಾಗಿ ನುಡಿದರು.
ಇದೇ ವೇಳೆ ಜಿಲ್ಲಾ ಉಸ್ತುವಾರಿ ಸಚಿವೆ ಶ್ರೀಮತಿ ಶಶಿಕಲಾ ಜೊಲ್ಲೆ ಅವರು ಮಾತನಾಡಿ ಸರ್ಕಾರವೇ ರೈತರ ಬಳಿ ಬಂದಿದ್ದು, ಕೃಷಿ ಸಚಿವರು ಪ್ರಗತಿಪರ ರೈತರಿಗೆ ಪ್ರೋತ್ಸಾಹಿಸುತ್ತಿರುವುದು ಹೆಮ್ಮೆಯ ವಿಷಯವಾಗಿದೆ. ರಾಜ್ಯದ ಬೇರೆ ಬೇರೆ ಜಿಲ್ಲೆಗೆ ಇಂತಹ ಕಾರ್ಯಕ್ರಮಗಳ ಮೂಲಕ ರೈತರಿಗೆ ಪ್ರೋ ತ್ಸಾಹಿಸುತ್ತಿರುವುದು ರೈತರಲ್ಲಿ ಆತ್ಮಸ್ಥೈರ್ಯ ತುಂಬಲಿದೆ. ಅದರಂತೆ ಹತಾಶೆಗೊಂಡ ರೈತರಿಗೂ ಇಂತಹ ಸಚಿವರ ವಿಶೇಷ ಕಾರ್ಯಕ್ರಮಗಳಿಂದ ಹೆಚ್ಚಿನ ಉತ್ಸಾಹ ಮತ್ತು ಪೆÇ್ರೀತ್ಸಾಹ ದೊರೆಯಲಿದೆ. ಜಿಲ್ಲೆಯಲ್ಲಿಯೂ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಲು ಕುಂದುಕೊರತೆ ಸಭೆಯನ್ನು ಸಹ ಆಯೋಜಿಸಲಾಗುತ್ತಿದೆ ಎಂದು ಹೇಳಿದರು.
ಕವಡಿಮಟ್ಟಿ ಗ್ರಾಮದಲ್ಲಿ ಕಾರ್ಯಕ್ರಮ
ನಂತರ ಕವಡಿಮಟ್ಟಿ ಗ್ರಾಮದಲ್ಲಿ ರೈತರೊಂದಿಗೊಂದು ದಿನ ಮುಕ್ತಾಯ ಕಾರ್ಯಕ್ರಮದಲ್ಲಿ ದೀಪ ಬೆಳಗಿಸಿ ರೈತರ ಹೊಲಗಳಿಗೆ ರಸ್ತೆ ಸುಧಾರಣೆ, ರೈತ ಮಿತ್ರ ಮೊಬೈಲ್ ಆ್ಯಪ್ ಬಿಡುಗಡೆಗೊಳಿಸಿ ಮಾತನಾಡಿದ ಸಚಿವ ಬಿ.ಸಿ ಪಾಟೀಲ ಅವರು ರೈತರಿಗೆ ಆತ್ಮಸ್ಥೈರ್ಯ ತುಂಬಬೇಕು.
ಆತ ಎದೆಯುಬ್ಬಿಸಿ ನಡೆಯುವಂತೆ ಮಾಡಬೇಕು. ಕೃಷಿ ಇದ್ದರೆ ಮಾತ್ರ ಜಗತ್ತು, ಜೀವನ ಅನ್ನೋದು ಇರುತ್ತೆ. ಕೃಷಿಯಿಲ್ಲದಿದ್ದರೆ ಏನೂ ಇಲ್ಲ ಎಲ್ಲವೂ ದುರ್ಭಿಕ್ಷವಾಗುತ್ತೆ. ಇದಕ್ಕಾಗಿಯೇ ರಾಜ್ಯದ ಪ್ರತಿ ಜಿಲ್ಲೆಯಲ್ಲಿ ರೈತರೊಂದಿಗೊಂದು ದಿನ ವಿನೂತನ ಕಾರ್ಯಕ್ರಮ ನಡೆಸುತ್ತಿದ್ದೇನೆ. ಎಲ್ಲಾ ಜಿಲ್ಲೆಗಳ ರೈತರ ಸ್ಥಿತಿಗತಿ ಅಧ್ಯಯನ ಮಾಡಿದ ಮೇಲೆ ಸರ್ಕಾರಕ್ಕೆ ವರದಿ ಸಲ್ಲಿಸುತ್ತೇನೆ.
ರೈತರನ್ನು ನೋವಿನಿಂದ ಮುಕ್ತಗೊಳಿಸುವ ಮಾರ್ಗೋಪಾಯ ಕಂಡುಕೊಳ್ಳುತ್ತೇನೆ. ಕೃಷಿ ನೀತಿಯಲ್ಲಿ ಸಮಗ್ರ ಬದಲಾವಣೆ ಅಗತ್ಯವಾಗಿದ್ದು ಕಡಿಮೆ ಖರ್ಚು ಹೆಚ್ಚು ಆದಾಯ ಪದ್ಧತಿ ಜಾರಿಗೆ ಬರಬೇಕಿದೆ. ಇಂದು ನಾವೆಲ್ಲ ಭೂಮಿಗೆ ವಿಷವುಣಿಸುತ್ತಿದ್ದೇವೆ, ವಿಷವನ್ನೇ ಸೇವಿಸ್ತಿದ್ದೇವೆ. ತಿನ್ನೋ ಅನ್ನ ವಿಷಪೂರಿತವಾಗಿದೆ. ನಾವೆಲ್ಲ ಸಾವಯವಕ್ಕೆ ಮಹತ್ವ ಕೊಡಬೇಕಿದೆ. ರೈತರು ನೇರವಾಗಿ ಮಾರುಕಟ್ಟೆ ಪ್ರವೇಶಿಸುವಂತಾಗಬೇಕು.
ರಾಜ್ಯದ 68 ಲಕ್ಷ ರೈತರಿಗೆ ಸ್ವಾಭಿಮಾನಿ ಕಾರ್ಡ ಕೊಡುವ ಯೋಜನೆ ಹಂತಹಂತವಾಗಿ ಎಲ್ಲ ಜಿಲ್ಲೆಗಳಿಗೂ ವಿಸ್ತರಿಸಲಾಗುತ್ತದೆ. ನೀರಾವರಿ ಭೂಮಿಯಲ್ಲಿ ನಿರಂತರ ಹಣ ಬರಬೇಕಾದ್ರೆ ಸಮಗ್ರ ಕೃಷಿ ಅಳವಡಿಸಿಕೊಳ್ಳಬೇಕು. ಈ ಪದ್ಧತಿ ಕೋಲಾರದಲ್ಲಿದೆ. 1200 ವರ್ಷಗಳ ಹಿಂದೆ ಬಸವಣ್ಣ ಕೃಷಿ, ಕೃಷಿಕರಿಗೆ ಕೊಟ್ಟಿದ್ದ ಮಹತ್ವವನ್ನು ನಾವಿಂದು ಅನುಸರಿಸಬೇಕಾಗಿದೆ.
ಈ ದೇಶದಲ್ಲಿ ಶೇ.60ರಷ್ಟು ಉದ್ಯೋಗ ಕೊಡ್ತಿರೋದು ರೈತರು. ಶೇ.18ರಷ್ಟು ಜಿಎಸ್ಟಿ ರೈತರಿಂದಲೇ ಬರುತ್ತದೆ. ಕೇಂದ್ರ ಸರ್ಕಾರ ರಾಜ್ಯಕ್ಕೆ 8 ಎಫ್ಪಿಓಗಳನ್ನು ಮಂಜೂರು ಮಾಡಿದೆ. ಕೃಷಿಗೆ ಒಂದು ಲಕ್ಷ ಕೋಟಿ ರೂ ಮೀಸಲಿಟ್ಟಿದೆ ಎಂದು ಹೇಳಿದರು.
ಶಾಸಕ ಎ.ಎಸ್ ಪಾಟೀಲ (ನಡಹಳ್ಳಿ) ಮಾತನಾಡಿ ಮುದ್ದೇಬಿಹಾಳ ತಾಲೂಕಿನಲ್ಲಿ ಸಮಗ್ರ ಕೃಷಿ ಪದ್ಧತಿ, ಪಶುಸಂಗೋಪನೆ, ಮೀನುಗಾರಿಕೆ ಸೇರಿದಂತೆ ವಿವಿಧ ರೀತಿಯ ಚಟುವಟಿಕೆಗಳಿಗೆ ಅನುಕೂಲಕರ ವಾತಾವರಣ ಇದೆ. ಕಾರಣ ಕೃಷಿ ಸಂಶೋಧನಾ ಮತ್ತು ಕೌಶಲ್ಯ ಕೇಂದ್ರವನ್ನು ಮತ್ತು ಕೃಷಿ ವಿಸ್ತರಣಾ ಕೇಂದ್ರವನ್ನು ಸ್ಥಾಪಿಸಲು ಕೃಷಿ ಸಚಿವರಲ್ಲಿ ಮನವಿ ಮಾಡಿ ಸರ್ಕಾರಿ ಜಮೀನಿನ ಲಭ್ಯತೆಯೂ ಸಹ ಇದೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಕೃಷಿ ಸಚಿವರು ಹಾಗೂ ಗಣ್ಯರು ಜಲಪುರ ಕೆರೆಗೆ ಬಾಗಿನ ಅರ್ಪಣೆ ಮಾಡಿದರು. ರೈತರ ಮೆರವಣಿಗೆ, ಕೃಷಿ ವಸ್ತು ಪ್ರದರ್ಶನ ವೀಕ್ಷಣೆ, ವಿವಿಧ ಫಲಾನುಭವಿಗಳಿಗೆ ಸವಲತ್ತು ವಿತರಣೆ, ಆತ್ಮಾ ಯೋಜನೆಯಡಿ ಪ್ರಶಸ್ತಿ ವಿಜೇತ ರೈತರಿಗೆ ಸನ್ಮಾನಿಸುವ ಮೂಲಕ ಅತ್ಯಂತ ಯಶಸ್ವಿ ಮತ್ತು ಅರ್ಥಪೂರ್ಣವಾಗಿ ಕಾರ್ಯಕ್ರಮವನ್ನು ಹಮ್ಮಿಕೊಂಡು ಮುಕ್ತಾಯಗೊಳಿಸಲಾಯಿತು.
ಜಿಲ್ಲಾಧಿಕಾರಿ ಪಿ.ಸುನೀಲ ಕುಮಾರ್ ಅವರು ಮಾತನಾಡಿ ಕೃಷಿ ಸಚಿವರ ಆಸಕ್ತಿಯಿಂದ ರೈತರ ಮನೆಬಾಗಿಲಿಗೆ ತೆರಳಿ ಹೊಲಗಳ ಮಣ್ಣು ಪರೀಕ್ಷೆಗೆ ಮೊಬೈಲ್ ವಾಹನ ಯೋಜನೆ ಜಾರಿಗೊಳಿಸಲಾಗಿದೆ. ರೈತರ ಮನೆಬಾಗಿಲಿಗೆ ಸರ್ಕಾರ ಬಂದಿದ್ದು, ರೈತರಿಗೆ ನೆರವು ನೀಡಲಾಗುತ್ತಿದೆ. ಈಗಾಗಲೇ ಅತಿವೃಷ್ಟಿಯಿಂದ ಹಾನಿಯಾದ ರೈತರಿಗೆ ಪರಿಹಾರ ವಿತರಿಸಲಾಗಿದೆ. ಫಸಲ್ ಬಿಮಾ ಯೋಜನೆ ಸಮಸ್ಯೆಗಳನ್ನು ಯಾವುದೇ ಅವಧಿಯಲ್ಲಿ ಸಂಪರ್ಕಿಸಿ ಪರಿಹರಿಸಿಕೊಳ್ಳಬಹುದಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವೆ ಶ್ರೀಮತಿ ಶಶಿಕಲಾ ಜೊಲ್ಲೆ, ಶಾಸಕ ಎ.ಎಸ್. ಪಾಟೀಲ ನಡಹಳ್ಳಿ, ಜಿಲ್ಲಾಧಿಕಾರಿ ಪಿ. ಸುನೀಲಕುಮಾರ, ಜಿಲ್ಲಾ ಪಂಚಾಯತ್ ಸಿ.ಇ.ಒ ಗೋವಿಂದ ರೆಡ್ಡಿ, ತಹಶೀಲ್ದಾರರು ಸೇರಿದಂತೆ ಇತರ ಅಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನನ್ನ ನೆಚ್ಚಿನ ಪುಸ್ತಕ ವಿಮರ್ಶೆ ಸ್ಪರ್ಧೆ ; ವಿದ್ಯಾರ್ಥಿಗಳಿಗೆ ಬಹುಮಾನ
ಸುದ್ದಿದಿನ,ದಾವಣಗೆರೆ:ಪೂಜ್ಯ ಡಾ|| ಸದ್ಯೋಜಾತ ಶಿವಾಚಾರ್ಯ ಮಹಾಸ್ವಾಮಿಗಳವರ ಸ್ಮರಣಾರ್ಥ ಹಾಗೂ ಶಿಕ್ಷಕರ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ದಾವಣಗೆರೆ ಜಿಲ್ಲಾ ಮಟ್ಟದ “ನನ್ನ ನೆಚ್ಚಿನ ಪುಸ್ತಕ” ವಿಮರ್ಶೆ ಸ್ಪರ್ಧೆಯಲ್ಲಿ ಜಿಲ್ಲೆಯ ಹಲವಾರು ಪ್ರೌಢಶಾಲೆಯ ಮಕ್ಕಳು ಭಾಗವಹಿಸಿದ್ದರು.
ತೀರ್ಪುಗಾರರ ಮೆಚ್ಚುಗೆ ಪಡೆದ ಸಿದ್ಧಗಂಗಾ ಸಂಸ್ಥೆಯ ನಯಾಸ ಡಿ.ಎಸ್. ಪ್ರಥಮ ಬಹುಮಾನವಾಗಿ ಒಂದು ಸಾವಿರ, ದ್ವಿತೀಯ ಬಹುಮಾನ ಗಳಿಸಿದ ಜಾಹ್ನವಿ ರೂ. 750 ಮತ್ತು ತೃತೀಯ ಬಹುಮಾನ ಗಳಿಸಿದ ಚೈತನ್ಯ ವಿ. ಎಸ್. ರೂ. 500 ನಗದು ಬಹುಮಾನ ಪಡೆದರು. ಜೊತೆಗೆ ಈ ಮಕ್ಕಳಿಗೆ ಆಯೋಜಕರು ಸ್ಮರಣಿಕೆ, ಪ್ರಶಸ್ತಿಪತ್ರ ನೀಡಿ ಶಾಲು ಹೊದಿಸಿ ಸನ್ಮಾನಿಸಿದರು. ಎಳೆಯರ ಪ್ರಬುದ್ಧತೆಯನ್ನು ಶ್ಲಾಘಿಸಿದರು.
ಸಿದ್ಧಗಂಗಾ ವಿದ್ಯಾಸಂಸ್ಥೆಯ ಮುಖ್ಯಸ್ಥೆ ಜಸ್ಟಿನ್ ಡಿಸೌಜ ಅವರು ವಿಜೇತ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ವಿದ್ಯಾರ್ಥಿಗಳ ನಿರಂತರ ಪರಿಶ್ರಮ, ಶಿಕ್ಷಕರ ಮಾರ್ಗದರ್ಶನ ಪಾಲಕರ ಪ್ರೋತ್ಸಾಹ ಈ ಯಶಸ್ಸಿಗೆ ಕಾರಣವಾಗಿದೆ ಎಂದರು.
ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಪಠ್ಯಪುಸ್ತಕಗಳ ಜೊತೆಗೆ ಉತ್ತಮ ಕಾದಂಬರಿಗಳು, ಕಥಾಸಂಕಲನಗಳು, ಸಾಧಕರ ಆತ್ಮಕಥೆ ಕುರಿತಾದ ಪುಸ್ತಕಗಳನ್ನು ಓದುವ ಹವ್ಯಾಸ ಅತ್ಯಂತ ಮಹತ್ವದ್ದು, ಓದಿನ ಮೂಲಕ ಜ್ಞಾನ ವೃದ್ಧಿಯಾಗುವುದರ ಜೊತೆಗೆ ಚಿಂತನೆ, ವಿಶ್ಲೇಷಣೆ ಮತ್ತು ಅಭಿವ್ಯಕ್ತಿ ಸಾಮರ್ಥ್ಯವೂ ವೃದ್ಧಿಯಾಗುತ್ತದೆ. ವಿದ್ಯಾರ್ಥಿಗಳು ಮುಂದೆಯೂ ಇಂತಹ ಸಾಹಿತ್ಯಿಕ ಚಟುವಟಿಕೆಗಳಲ್ಲಿ ಸಕ್ರೀಯವಾಗಿ ಪಾಲ್ಗೊಂಡು ಹೆಚ್ಚಿನ ಸಾಧನೆ ಮಾಡಬೇಕು ಎಂದು ಶುಭ ಹಾರೈಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಚಿತ್ರದುರ್ಗ | ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಡಿ.ಡಿ ಬಿ.ಮಲ್ಲಿಕಾರ್ಜುನ, ಕ್ರೈಸ್ ಇ.ಡಿ ಬಿ.ಶಿವಸ್ವಾಮಿ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ಚಿತ್ರದುರ್ಗ: ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ವಸತಿ ಶಾಲೆಗಳಿಗೆ (ಕ್ರೈಸ್) ನಿಯಮಾನುಸಾರ ಆಹಾರ ಸಾಮಾಗ್ರಿಗಳನ್ನು ಸರಬರಾಜು ಮಾಡದೆ ವಂಚಿಸುತ್ತಿರುವ ಶ್ರೀ ಶಿರಡಿ ಪ್ರಾವಿಜನ್ ಸ್ಟೋರ್, ಚಿಕ್ಕಬಳ್ಳಾಪುರ ಇವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರಿದ ಚಿತ್ರದುರ್ಗ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಬಿ. ಮಲ್ಲಿಕಾರ್ಜುನ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಇದರ ಕಾರ್ಯನಿರ್ವಾಹಕ ನಿರ್ದೇಶಕರಾದ ಬಿ.ಶಿವಸ್ವಾಮಿ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ ವಸತಿ ಶಾಲೆಗಳಿಗೆ ಅಧಿಕೃತ ಟೆಂಡರುದಾರರಾದ ಶ್ರೀ ಶಿರಡಿ ಸಾಯಿ ಪ್ರಾವಿಜನ್ ಸ್ಟೋರ್, ಚಿಕ್ಕಬಳ್ಳಾಪುರ ಇವರು ನಿಯಮಾನುಸಾರ ಆಹಾರ ಸಾಮಾಗ್ರಿಗಳನ್ನು ವಿತರಣೆ ಮಾಡದೆ ಇರುವ ಅಧಿಕೃತ ಮಾಹಿತಿ ತಿಳಿದು, ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಚಿತ್ರದುರ್ಗ ಇವುಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳ ಪ್ರಾಂಶುಪಾಲರುಗಳಿAದ ಮಾಹಿತಿಹಕ್ಕು ಅಡಿಯಲ್ಲಿ ಪಡೆದ ದೃಢೀಕೃತ ದಾಖಲೆಗಳನ್ನು ಪರಿಶೀಲನೆ ಮಾಡಿದಾಗ ಆಹಾರ ಸಾಮಾಗ್ರಿ ಸರಬರಾಜಿನಲ್ಲಿ ಹಲವಾರು ಲೋಪದೋಷಗಳು ಕಂಡು ಬಂದಿರುತ್ತವೆ.
ಆದ ಕಾರಣ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಉಪ ನಿರ್ದೇಶಕರು, ಜಿಲ್ಲಾ ಸಮಾಜ ಕಲ್ಯಾಣ ನಾವು ದೂರು ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಯಾವುದೇ ಪ್ರತ್ಯುತ್ತರವನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ಇರುವ ಕಾರಣ ದಿನಾಂಕ: 21-04-2026 ರಂದು ಜ್ಞಾಪನವನ್ನು ನೀಡಲಾಗಿತ್ತು. ಆದರೆ ಜ್ಞಾಪನ ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಉಪ ನಿರ್ದೇಶಕರು, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ, ಚಿತ್ರದುರ್ಗ ದೂರು ಅರ್ಜಿಗೆ ಸಂಬAಧಿಸಿದAತೆ ತನಿಖಾ ವರದಿಯನ್ನಾಗಲಿ ಅಥವಾ ಪ್ರತ್ಯುತ್ತರವನ್ನಾಗಲಿ ನೀಡಿರುವುದಿಲ್ಲ.
ಈ ಬಗ್ಗೆ ಕಾರ್ಯನಿರ್ವಾಹಕ ನಿರ್ದೇಶಕರು, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಬೆಂಗಳೂರು ಇವರಿಗೆ ದೂರು ನೀಡಲಾಗಿತ್ತು. ಆದರೆ ಇವರು ಕೂಡ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಕರ್ತವ್ಯ ಲೋಪ ಎಸಗಿದ ಅಧಿಕಾರಿಗಳ ವಿರುದ್ದ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಾಳೆ ʼನಿರಾಕಾರ ವಿಶ್ವಕರ್ಮʼ ಕೃತಿ ಬಿಡುಗಡೆ
ಸುದ್ದಿದಿನ,ಬೆಂಗಳೂರು:ಕಾವ್ಯಸ್ಪಂದನ ಪ್ರಕಾಶನವು ಪ್ರಕಟಿಸಿರುವ ಪತ್ರಕರ್ತ, ಲೇಖಕ ಚಂದ್ರಶೇಖರ ಗಂಧನಹಳ್ಳಿ ಅವರ ʼನಿರಾಕಾರ ವಿಶ್ವಕರ್ಮʼ ಕೃತಿಯು ಸೆಪ್ಟೆಂಬರ್ 17ರಂದು ಬಿಡುಗಡೆಯಾಗಲಿದೆ. ಅಂದು ಬೆಳಗ್ಗೆ 10.30ಕ್ಕೆ ಮೈಸೂರು ಜಿಲ್ಲೆ, ಕೆ.ಆರ್.ನಗರ ತಾಲೂಕು ಆಡಳಿತ ಕಚೇರಿಯ ಸಭಾಂಗಣದಲ್ಲಿ ತಾಲೂಕು ಆಡಳಿತದ ಆಶ್ರಯ, ತಾಲೂಕು ವಿಶ್ವಕರ್ಮ ಸೇವಾ ಸಮಾಜ ಹಾಗೂ ತಾಲೂಕು ವಿಶ್ವಕರ್ಮ ಸಂಘದ ಜಂಟಿ ವತಿಯಿಂದ ಆಯೋಜಿಸಿರುವ ‘ವಿಶ್ವಕರ್ಮ ಜಯಂತಿ’ ಕಾರ್ಯಕ್ರಮದಲ್ಲಿ ಶಾಸಕರಾದ ಡಿ. ರವಿಶಂಕರ್ ಅವರು ಕೃತಿಯನ್ನು ಲೋಕಾರ್ಪಣೆ ಮಾಡಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಹಶೀಲ್ದಾರ್ ಜಿ. ಸುರೇಂದ್ರ ಮೂರ್ತಿ ಅವರು ವಹಿಸಲಿದ್ದಾರೆ. ತಾಲೂಕು ವಿಶ್ವಕರ್ಮ ಸೇವಾ ಸಮಾಜದ ಅಧ್ಯಕ್ಷ ರೇವಣ್ಣ, ತಾಲೂಕು ವಿಶ್ವಕರ್ಮ ಸಂಘದ ಅಧ್ಯಕ್ಷ ವೇಣುಗೋಪಾಲ್ ಎನ್., ಪದಾಧಿಕಾರಿಗಳಾದ ಈಶ್ವರಾಚಾರ್, ಚೇತನ್ ಮೂರ್ತಿ ಸೇರಿದಂತೆ ವಿಶ್ವಕರ್ಮ ಸಮುದಾಯದ ಮುಖಂಡರು ಹಾಗೂ ತಾಲೂಕು ಆಡಳಿತದ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ. ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಶ್ರೀ ಕಾಳಿಕಾಂಬಾ ದೇವಾಲಯದಲ್ಲಿ ವಿಶ್ವಕರ್ಮ ಜಯಂತಿ ಪ್ರಯುಕ್ತ ವಿಶೇಷ ಪೂಜೆ ನೆರವೇರಲಿದ್ದು, ಬಳಿಕ ಅಲ್ಲಿಂದ ತಾಲೂಕು ಆಡಳಿತ ಕಚೇರಿಯವರೆಗೆ ಮೆರವಣಿಗೆ ನಡೆಯಲಿದೆ.
ವಿಶೇಷವೆಂದರೆ, ಪ್ರಕಾಶಕರು ಹಾಗೂ ಆಯೋಜಕರ ಆಸಕ್ತಿಯ ಮೇರೆಗೆ ‘ನಿರಾಕಾರ ವಿಶ್ವಕರ್ಮ’ ಕೃತಿಯನ್ನು ತಿಂಗಳ ಅಂತರದಲ್ಲಿ ಮೂರು ಪ್ರತ್ಯೇಕ ಕಾರ್ಯಕ್ರಮಗಳಲ್ಲಿ ಬಿಡುಗಡೆ ಮಾಡಲಾಗುತ್ತಿದೆ. ಸೆಪ್ಟೆಂಬರ್ 17ರಂದು ಕೆ.ಆರ್.ನಗರದಲ್ಲಿ ಕೃತಿ ಬಿಡುಗಡೆಯಾದರೆ, ಸೆಪ್ಟೆಂಬರ್ 20ರಂದು ಬೆಂಗಳೂರಿನ ತಾತಗುಣಿಯ ವಿಶ್ವಕರ್ಮ ನಗರದಲ್ಲಿ ಕರ್ನಾಟಕ ರಾಜ್ಯ ವಿಶ್ವಕರ್ಮ ಮಹಾಮಂಡಳಿಯ ವತಿಯಿಂದ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ಕೃತಿ ಲೋಕಾರ್ಪಣೆಗೊಳ್ಳಲಿದೆ. ಹಾಗೆಯೇ, ನವೆಂಬರ್ 22ರಂದು ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಕಾವ್ಯಸ್ಪಂದನ ಪ್ರಕಾಶನ ಏರ್ಪಡಿಸಿರುವ ಕಾರ್ಯಕ್ರಮದಲ್ಲಿಯೂ ಈ ಕೃತಿ ಬಿಡುಗಡೆಯಾಗಲಿದೆ.
ಮಾನವ ನಾಗರಿಕತೆಯ ಇತಿಹಾಸವನ್ನು ತೆರೆದರೆ, ಅದರ ಪ್ರತಿಯೊಂದು ಪುಟದ ಹಿಂದೆಯೂ ಶ್ರಮಿಸಿದ ಅನಾಮಿಕ ಕೈಗಳು ಕಾಣಿಸುತ್ತವೆ. ಆ ಕೈಗಳು ಕಲ್ಲನ್ನು ಕೆತ್ತಿ ದೇವಸ್ಥಾನವಾಗಿಸಿವೆ, ಕಬ್ಬಿಣವನ್ನು ಬಡಿದು ಆಯುಧವಾಗಿಸಿವೆ, ಮರಕ್ಕೆ ರೂಪ ಕೊಟ್ಟು ಬಾಗಿಲಾಗಿಸಿವೆ, ಮಣ್ಣಿಗೆ ಜೀವ ತುಂಬಿ ಮಡಕೆಯಾಗಿಸಿವೆ; ಹಾಗೆಯೇ ಬಣ್ಣಗಳ ಮೂಲಕ ಅಚ್ಚಳಿಯದ ಭಾವನೆಗಳನ್ನು ಮೂಡಿಸಿವೆ. ಆ ಸೃಷ್ಟಿಶೀಲ ಕೈಗಳಿಗೆ ಬಹುಶಃ ಇತಿಹಾಸದ ಅಧಿಕೃತ ಪುಟಗಳಲ್ಲಿ, ರಾಜ-ಮಹಾರಾಜರ ಕಥೆಗಳ ನಡುವೆ ದೊಡ್ಡ ಅಕ್ಷರಗಳಲ್ಲಿ ಹೆಸರು ಸಿಕ್ಕಿಲ್ಲದಿರಬಹುದು. ಆದರೆ ಅವರು ನಿರ್ಮಿಸಿದ ಕಲೆ, ಶಿಲ್ಪ, ವಾಸ್ತು, ಉಪಕರಣ ಮತ್ತು ಸೌಂದರ್ಯವೇ ನಮ್ಮ ನಾಗರಿಕತೆಯ ಉಸಿರಾಗಿ, ಜೀವಂತ ಸಾಕ್ಷಿಗಳಾಗಿ ಇಂದಿಗೂ ಉಳಿದಿವೆ. ಅಂತಹ ಸೃಜನಶೀಲ ಕೈಗಳ ಸಮೂಹ ಸ್ಮೃತಿಯನ್ನು, ಪರಂಪರೆಯನ್ನು ಮತ್ತು ಇತಿಹಾಸವನ್ನು ಅರಿಯುವ ಅರ್ಥಪೂರ್ಣ ಪ್ರಯತ್ನವನ್ನು ನಿರಾಕಾರ ವಿಶ್ವಕರ್ಮ ಕೃತಿಯಲ್ಲಿ ಲೇಖಕರಾದ ಚಂದ್ರಶೇಖರ ಗಂಧನಹಳ್ಳಿ ಅವರು ಮಾಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243


