ದಿನದ ಸುದ್ದಿ
ಭದ್ರಾ ನಾಲೆಗಳ ಮೂಲಕ ಹರಿಸುತ್ತಿರುವ ನೀರು, ಮೇ.20 ರವರೆಗೆ ಮುಂದೂಡಿಕೆ
ಸುದ್ದಿದಿನ,ದಾವಣಗೆರೆ : ಭದ್ರಾ ಜಲಾಶಯದಿಂದ ನೀರು ಸ್ಥಗಿತಗೊಳಿಸುವ ನಿರ್ಧಾರವನ್ನು ಕಾಡಾ ಮುಂದೂಡಿ, ಮೇ.20 ರವರೆಗೆ ನೀರು ಹರಿಸಲು ನಿರ್ಧರಿಸಿದೆ ಎಂದು ಭದ್ರಾ ಕಾಡಾ ಸಮಿತಿ ಅಧ್ಯಕ್ಷರಾದ ಪವಿತ್ರರಾಮಯ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಭದ್ರಾ ಎಡದಂಡೆ ಮತ್ತು ಬಲದಂಡೆ ನಾಲೆಗಳ ಮೂಲಕ ಹರಿಸುತ್ತಿರುವ ನೀರನ್ನು ಜ.12 ರಿಂದ 120 ದಿನಗಳ ಕಾಲ ಅಂದರೆ ಮೇ.12 ಕ್ಕೆ ನಿಲ್ಲಿಸಲು ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ (ಕಾಡಾ) 2020 ರ ಡಿ.12 ರಂದು ಹರಿಹರ ತಾಲ್ಲೂಕು ಮಲೆಬೆನ್ನೂರಿನ ಕರ್ನಾಟಕ ನೀರಾವರಿ ನಿಗಮದಲ್ಲಿ ನಡೆದ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ನಿರ್ಧರಿಸಿತ್ತು.
ಕೊರೊನ ಸಂಕಷ್ಟದ ಸಮಯದಲ್ಲಿ ಭದ್ರಾ ಅಚ್ಚುಕಟ್ಟು ಭಾಗದ ರೈತರು ಒತ್ತಾಯಿಸಿದ ಪರಿಣಾಮ ಮೇ.20 ರ ಮಧ್ಯ ರಾತ್ರಿ ನಾಲೆಗಳಿಗೆ ಹರಿಸುತ್ತಿರುವ ನೀರನ್ನು ನಿಲ್ಲಿಸುವಂತೆ ಅಧಿಸೂಚನೆ ಹೊರಡಿಸಲಾಗಿದೆ.
2021ನೇ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯ ಶಿವಮೊಗ್ಗ ತಾಲ್ಲೂಕಿನಲ್ಲಿ 4,295 ಹೆಕ್ಟರ್ ಹಾಗೂ ಭದ್ರಾವತಿ ತಾಲ್ಲೂಕಿನಲ್ಲಿ 5635 ಹೆಕ್ಟರ್ ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 9,930 ಹೆಕ್ಟರ್ನಲ್ಲಿ ಭತ್ತ ಬೆಳೆಯಲಾಗಿದೆ.
ಇದನ್ನೂ ಓದಿ | ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ : ಶಿಷ್ಯವೇತನಕ್ಕೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ
ದಾವಣಗೆರೆ ಜಿಲ್ಲೆಯ ದಾವಣಗೆರೆ ತಾಲ್ಲೂಕಿನಲ್ಲಿ 18,820 ಹೆಕ್ಟರ್, ಹರಿಹರ ತಾಲ್ಲೂಕಿನಲ್ಲಿ 18,325 ಹೆಕ್ಟರ್, ಚನ್ನಗಿರಿ ತಾಲ್ಲೂಕಿನಲ್ಲಿ 6,955 ಹೆಕ್ಟರ್, ಹೊನ್ನಾಳಿ ತಾಲ್ಲೂಕಿನಲ್ಲಿ 5,100 ಹೆಕ್ಟರ್, ಮತ್ತು ನ್ಯಾಮತಿ ತಾಲ್ಲೂಕಿನಲ್ಲಿ 1210 ಹೆಕ್ಟರ್ನಲ್ಲಿ ಭತ್ತ ಬೆಳೆಯಲಾಗಿದ್ದು ದಾವಣಗೆರೆ ಜಿಲ್ಲೆಯಲ್ಲಿ ಒಟ್ಟು 50410 ಹೆಕ್ಟರ್ನಲ್ಲಿ ಭತ್ತ ಬೆಳೆಯಲಾಗಿದೆ. ಇತರೆ ತಾಲ್ಲೂಕುಗಳಾದ ಹರಪನಹಳ್ಳಿ ಮತ್ತು ತರೀಕೆರೆ ತಾಲ್ಲೂಕುಗಳಲ್ಲಿ ಕ್ರಮವಾಗಿ 2720, 1850 ಹೆಕ್ಟರ್ಗಳಲ್ಲಿ ಬೇಸಿಗೆ ಹಂಗಾಮಿನಲ್ಲಿ ಅಚ್ಚುಕಟ್ಟು ವ್ಯಾಪ್ತಿಯಲ್ಲಿ ಭತ್ತ ಬೆಳೆಯಲಾಗಿದೆ.
ಪ್ರತಿ ವರ್ಷವು ಅಚ್ಚುಕಟ್ಟು ವ್ಯಾಪ್ತಿಯ ರೈತರು ಒಂದಾದ ನಾಲೆಗಳ ಮೂಲಕ ಹರಿಸುವ ನೀರನ್ನು ಪಡೆಯಲು ಹೋರಾಟ ಮಾಡುವ ಪರಿಸ್ಥಿತಿ ನಿರ್ಮಾಣವಾಗುತ್ತಿತ್ತು. ಜೊತೆಗೆ ಕೊನೆಯ ಭಾಗದ ರೈತರು ಕಳೆದ 20 ವರ್ಷಗಳಿಂದ ನೀರನ್ನು ಕಾಣದೆ ಪರಿತಪಿಸುವಂತಾಗಿತ್ತು. ಆದರೆ ಈ ವರ್ಷ ಯಾವುದೇ ರೀತಿಯ ಗದ್ದಲ ಗಲಾಟೆ ಹೋರಾಟ ಇಲ್ಲದೆ ಅಚ್ಚುಕಟ್ಟು ಭಾಗದಲ್ಲಿ ನೀರು ಹರಿದಿರುವುದಲ್ಲದೆ, ಕೊನೆಯ ಭಾಗಕ್ಕೆ ಸರಾಗವಾಗಿ ನೀರು ಕೊಟ್ಟಿರುವುದು ಹೆಮ್ಮೆಯ ಸಂಗತಿಯಾಗಿದೆ.
ಕೇಂದ್ರ ಸರ್ಕಾರದ ಯೋಜನೆಯಾದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು ಪ್ರಪ್ರಥಮವಾಗಿ ಭದ್ರಾ ಕಾಡಾ ಪ್ರಾಧಿಕಾರವು ನಾಲೆಗಳಲ್ಲಿ ತುಂಬಿಕೊಂಡಿದ್ದ ಹೂಳು ಹಾಗೂ ಜಂಗಲ್ ಸ್ವಚ್ಚಗೊಳಿಸಲು ಬಳಸಿಕೊಂಡಿರುವುದು ಒಂದು ವಿಶೇಷ ದಾಖಲೆಯಾಗಿದೆ.
ಈ ಯೋಜನೆಯ ಮೂಲಕ ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆಯ ವ್ಯಾಪ್ತಿಯಲ್ಲಿ ಸುಮಾರು 150 ಕಿ.ಮೀ ಮುಖ್ಯ ಮತ್ತು ಉಪ ನಾಲೆಗಳನ್ನು ಸ್ವಚ್ಚಗೊಳಿಸಿದೆ. ಸುಮಾರು 1,70,000 ಅಧಿಕ ಮಾನವ ದಿನಗಳನ್ನು ಬಳಸಿಕೊಳ್ಳಲಾಗಿದೆ. ಸುಮಾರು ರೂ 7 ಕೋಟಿಗೂ ಅಧಿಕ ಅನುದಾನ ಉಪಯೋಗಿಸಿಕೊಂಡಿದೆ.
ಪ್ರತಿ ಬಾರಿಯು ನೀರಾವರಿ ಸಲಹಾ ಸಮಿತಿ ಸಭೆಯು ಶಿವಮೊಗ್ಗದ ಕೇಂದ್ರ ಕಚೇರಿಯಲ್ಲಿ ನಡೆಸುವುದು ವಾಡಿಕೆಯಾಗಿತ್ತು. ಆದರೆ ಭದ್ರಾ ಕಾಡಾ ಅಧ್ಯಕ್ಷರಾದ ನಂತರ ಅಚ್ಚುಕಟ್ಟಿನ ಕೊನೆಯ ಭಾಗಕ್ಕೆ ಸೇರುವ ಹರಿಹರ ತಾಲ್ಲೂಕು ಮಲೆಬೆನ್ನೂರಿನಲ್ಲಿ ಪ್ರವಾಸ ಕೈಗೊಂಡಾಗ ರೈತರು ಈ ಬಾರಿಯ ಸಭೆಯನ್ನು ಇಲ್ಲಿಯೇ ನಡೆಸಲು ಒತ್ತಾಯಿಸಿದಾಗ ಅದನ್ನು ಸಮ್ಮತಿಸಿ ಮಲೆಬೆನ್ನೂರಿನಲ್ಲಿ ಸಭೆ ನಡೆಸಿದ್ದು, ವಲಯವಾರು ಡಿಸ್ಟ್ರಿಬ್ಯೂಟರ್ಗಳಲ್ಲಿ ಎದುರಾಗುತ್ತಿದ್ದ ನೀರಿನ ಸಮಸ್ಯೆಗನ್ನು ನಮೂದಿಸಲು ರೈತರಿಗಾಗಿ ಸಾಯವಾಣಿ ಪ್ರಾರಂಭ ಮಾಡಿದ್ದೇವೆ.
ದಾವಣಗೆರೆ ಭಾಗದಲ್ಲಿ ನೂರಾರು ರೈತರು ನೀರಿನ ತೊಂದರೆಯ ಪರಿಣಾಮ ಪ್ರತಿ ಬಾರಿ ಜೋಳ ಬೆಳೆಯುತ್ತಿದ್ದರು. ಆದರೆ ಅದೇ ರೈತರು ಈ ಬಾರಿ ನೀರು ಸರಾಗವಾಗಿ ಸಿಕ್ಕ ಹಿನ್ನೆಲೆಯಲ್ಲಿ ಜೋಳ ಅಳಿಸಿ ಭತ್ತ ನಾಟಿ ಮಾಡಿ ಆರ್ಥಿಕ ಸಬಲರಾಗುವತ್ತ ದಾಪುಗಾಲು ಹಾಕಿದ್ದಾರೆ ಜೊತೆಗೆ ತಮ್ಮ ತಮ್ಮ ಜಮೀನುಗಳಿಗೆ ನೀರನ್ನು ಹಾಯಿಸಿಕೊಳ್ಳಲು ರಾತ್ರಿ ನಿದ್ರೆ ಬಿಡುವ ಪ್ರಸಂಗ ತಪ್ಪಿರುವುದು ಒಂದು ಸಂತಸದ ನಡೆಯಾಗಿದೆ. ಹೀಗೆ ಭದ್ರಾ ಕಾಡಾ ಪ್ರಾಧಿಕಾರ ವ್ಯಾಪ್ತಿಯಲ್ಲಿ ಹಲವಾರು ನೂತನ ವಿದ್ಯಾಮಾನಗಳನ್ನು ನಿರ್ಮಾಣ ಮಾಡುವ ಮೂಲಕ ಅಚ್ಚುಕಟ್ಟು ರೈತರು ಸಂತೃಪ್ತ ಜೀವನ ನಡೆಸಲು ಅನುವು ಮಾಡಿಕೊಡಲಾಗಿದೆ.
ಸಂಕಷ್ಟದ ಸಂದರ್ಭದಲ್ಲಿ ಯಾವುದೇ ಸಮಸ್ಯೆಯಾಗದಂತೆ ನಾಲಾ ನೀರು ಅಚ್ಚುಕಟ್ಟು ರೈತರಿಗೆ ತಲುಪಿಸಲು ಶ್ರಮವಹಿಸಿದ ಎಲ್ಲಾ ಅಧಿಕಾರಿ ವೃಂದದವರಿಗೆ, ನೀರು ಗಂಟಿಗಳಿಗೆ ಪ್ರಕಟಣೆಯ ಮೂಲಕ ಭದ್ರಾ ಅಚ್ಚುಕಟ್ಟು ಪ್ರದಾಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷೆ ಪವಿತ್ರ ರಾಮಯ್ಯ.ಕೆ.ಬಿ ಕೃತಜ್ಞತೆ ಸಲ್ಲಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಚಿತ್ರದುರ್ಗ | ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಡಿ.ಡಿ ಬಿ.ಮಲ್ಲಿಕಾರ್ಜುನ, ಕ್ರೈಸ್ ಇ.ಡಿ ಬಿ.ಶಿವಸ್ವಾಮಿ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ಚಿತ್ರದುರ್ಗ: ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ವಸತಿ ಶಾಲೆಗಳಿಗೆ (ಕ್ರೈಸ್) ನಿಯಮಾನುಸಾರ ಆಹಾರ ಸಾಮಾಗ್ರಿಗಳನ್ನು ಸರಬರಾಜು ಮಾಡದೆ ವಂಚಿಸುತ್ತಿರುವ ಶ್ರೀ ಶಿರಡಿ ಪ್ರಾವಿಜನ್ ಸ್ಟೋರ್, ಚಿಕ್ಕಬಳ್ಳಾಪುರ ಇವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರಿದ ಚಿತ್ರದುರ್ಗ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಬಿ. ಮಲ್ಲಿಕಾರ್ಜುನ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಇದರ ಕಾರ್ಯನಿರ್ವಾಹಕ ನಿರ್ದೇಶಕರಾದ ಬಿ.ಶಿವಸ್ವಾಮಿ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ ವಸತಿ ಶಾಲೆಗಳಿಗೆ ಅಧಿಕೃತ ಟೆಂಡರುದಾರರಾದ ಶ್ರೀ ಶಿರಡಿ ಸಾಯಿ ಪ್ರಾವಿಜನ್ ಸ್ಟೋರ್, ಚಿಕ್ಕಬಳ್ಳಾಪುರ ಇವರು ನಿಯಮಾನುಸಾರ ಆಹಾರ ಸಾಮಾಗ್ರಿಗಳನ್ನು ವಿತರಣೆ ಮಾಡದೆ ಇರುವ ಅಧಿಕೃತ ಮಾಹಿತಿ ತಿಳಿದು, ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಚಿತ್ರದುರ್ಗ ಇವುಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳ ಪ್ರಾಂಶುಪಾಲರುಗಳಿAದ ಮಾಹಿತಿಹಕ್ಕು ಅಡಿಯಲ್ಲಿ ಪಡೆದ ದೃಢೀಕೃತ ದಾಖಲೆಗಳನ್ನು ಪರಿಶೀಲನೆ ಮಾಡಿದಾಗ ಆಹಾರ ಸಾಮಾಗ್ರಿ ಸರಬರಾಜಿನಲ್ಲಿ ಹಲವಾರು ಲೋಪದೋಷಗಳು ಕಂಡು ಬಂದಿರುತ್ತವೆ.
ಆದ ಕಾರಣ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಉಪ ನಿರ್ದೇಶಕರು, ಜಿಲ್ಲಾ ಸಮಾಜ ಕಲ್ಯಾಣ ನಾವು ದೂರು ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಯಾವುದೇ ಪ್ರತ್ಯುತ್ತರವನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ಇರುವ ಕಾರಣ ದಿನಾಂಕ: 21-04-2026 ರಂದು ಜ್ಞಾಪನವನ್ನು ನೀಡಲಾಗಿತ್ತು. ಆದರೆ ಜ್ಞಾಪನ ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಉಪ ನಿರ್ದೇಶಕರು, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ, ಚಿತ್ರದುರ್ಗ ದೂರು ಅರ್ಜಿಗೆ ಸಂಬAಧಿಸಿದAತೆ ತನಿಖಾ ವರದಿಯನ್ನಾಗಲಿ ಅಥವಾ ಪ್ರತ್ಯುತ್ತರವನ್ನಾಗಲಿ ನೀಡಿರುವುದಿಲ್ಲ.
ಈ ಬಗ್ಗೆ ಕಾರ್ಯನಿರ್ವಾಹಕ ನಿರ್ದೇಶಕರು, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಬೆಂಗಳೂರು ಇವರಿಗೆ ದೂರು ನೀಡಲಾಗಿತ್ತು. ಆದರೆ ಇವರು ಕೂಡ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಕರ್ತವ್ಯ ಲೋಪ ಎಸಗಿದ ಅಧಿಕಾರಿಗಳ ವಿರುದ್ದ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಾಳೆ ʼನಿರಾಕಾರ ವಿಶ್ವಕರ್ಮʼ ಕೃತಿ ಬಿಡುಗಡೆ
ಸುದ್ದಿದಿನ,ಬೆಂಗಳೂರು:ಕಾವ್ಯಸ್ಪಂದನ ಪ್ರಕಾಶನವು ಪ್ರಕಟಿಸಿರುವ ಪತ್ರಕರ್ತ, ಲೇಖಕ ಚಂದ್ರಶೇಖರ ಗಂಧನಹಳ್ಳಿ ಅವರ ʼನಿರಾಕಾರ ವಿಶ್ವಕರ್ಮʼ ಕೃತಿಯು ಸೆಪ್ಟೆಂಬರ್ 17ರಂದು ಬಿಡುಗಡೆಯಾಗಲಿದೆ. ಅಂದು ಬೆಳಗ್ಗೆ 10.30ಕ್ಕೆ ಮೈಸೂರು ಜಿಲ್ಲೆ, ಕೆ.ಆರ್.ನಗರ ತಾಲೂಕು ಆಡಳಿತ ಕಚೇರಿಯ ಸಭಾಂಗಣದಲ್ಲಿ ತಾಲೂಕು ಆಡಳಿತದ ಆಶ್ರಯ, ತಾಲೂಕು ವಿಶ್ವಕರ್ಮ ಸೇವಾ ಸಮಾಜ ಹಾಗೂ ತಾಲೂಕು ವಿಶ್ವಕರ್ಮ ಸಂಘದ ಜಂಟಿ ವತಿಯಿಂದ ಆಯೋಜಿಸಿರುವ ‘ವಿಶ್ವಕರ್ಮ ಜಯಂತಿ’ ಕಾರ್ಯಕ್ರಮದಲ್ಲಿ ಶಾಸಕರಾದ ಡಿ. ರವಿಶಂಕರ್ ಅವರು ಕೃತಿಯನ್ನು ಲೋಕಾರ್ಪಣೆ ಮಾಡಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಹಶೀಲ್ದಾರ್ ಜಿ. ಸುರೇಂದ್ರ ಮೂರ್ತಿ ಅವರು ವಹಿಸಲಿದ್ದಾರೆ. ತಾಲೂಕು ವಿಶ್ವಕರ್ಮ ಸೇವಾ ಸಮಾಜದ ಅಧ್ಯಕ್ಷ ರೇವಣ್ಣ, ತಾಲೂಕು ವಿಶ್ವಕರ್ಮ ಸಂಘದ ಅಧ್ಯಕ್ಷ ವೇಣುಗೋಪಾಲ್ ಎನ್., ಪದಾಧಿಕಾರಿಗಳಾದ ಈಶ್ವರಾಚಾರ್, ಚೇತನ್ ಮೂರ್ತಿ ಸೇರಿದಂತೆ ವಿಶ್ವಕರ್ಮ ಸಮುದಾಯದ ಮುಖಂಡರು ಹಾಗೂ ತಾಲೂಕು ಆಡಳಿತದ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ. ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಶ್ರೀ ಕಾಳಿಕಾಂಬಾ ದೇವಾಲಯದಲ್ಲಿ ವಿಶ್ವಕರ್ಮ ಜಯಂತಿ ಪ್ರಯುಕ್ತ ವಿಶೇಷ ಪೂಜೆ ನೆರವೇರಲಿದ್ದು, ಬಳಿಕ ಅಲ್ಲಿಂದ ತಾಲೂಕು ಆಡಳಿತ ಕಚೇರಿಯವರೆಗೆ ಮೆರವಣಿಗೆ ನಡೆಯಲಿದೆ.
ವಿಶೇಷವೆಂದರೆ, ಪ್ರಕಾಶಕರು ಹಾಗೂ ಆಯೋಜಕರ ಆಸಕ್ತಿಯ ಮೇರೆಗೆ ‘ನಿರಾಕಾರ ವಿಶ್ವಕರ್ಮ’ ಕೃತಿಯನ್ನು ತಿಂಗಳ ಅಂತರದಲ್ಲಿ ಮೂರು ಪ್ರತ್ಯೇಕ ಕಾರ್ಯಕ್ರಮಗಳಲ್ಲಿ ಬಿಡುಗಡೆ ಮಾಡಲಾಗುತ್ತಿದೆ. ಸೆಪ್ಟೆಂಬರ್ 17ರಂದು ಕೆ.ಆರ್.ನಗರದಲ್ಲಿ ಕೃತಿ ಬಿಡುಗಡೆಯಾದರೆ, ಸೆಪ್ಟೆಂಬರ್ 20ರಂದು ಬೆಂಗಳೂರಿನ ತಾತಗುಣಿಯ ವಿಶ್ವಕರ್ಮ ನಗರದಲ್ಲಿ ಕರ್ನಾಟಕ ರಾಜ್ಯ ವಿಶ್ವಕರ್ಮ ಮಹಾಮಂಡಳಿಯ ವತಿಯಿಂದ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ಕೃತಿ ಲೋಕಾರ್ಪಣೆಗೊಳ್ಳಲಿದೆ. ಹಾಗೆಯೇ, ನವೆಂಬರ್ 22ರಂದು ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಕಾವ್ಯಸ್ಪಂದನ ಪ್ರಕಾಶನ ಏರ್ಪಡಿಸಿರುವ ಕಾರ್ಯಕ್ರಮದಲ್ಲಿಯೂ ಈ ಕೃತಿ ಬಿಡುಗಡೆಯಾಗಲಿದೆ.
ಮಾನವ ನಾಗರಿಕತೆಯ ಇತಿಹಾಸವನ್ನು ತೆರೆದರೆ, ಅದರ ಪ್ರತಿಯೊಂದು ಪುಟದ ಹಿಂದೆಯೂ ಶ್ರಮಿಸಿದ ಅನಾಮಿಕ ಕೈಗಳು ಕಾಣಿಸುತ್ತವೆ. ಆ ಕೈಗಳು ಕಲ್ಲನ್ನು ಕೆತ್ತಿ ದೇವಸ್ಥಾನವಾಗಿಸಿವೆ, ಕಬ್ಬಿಣವನ್ನು ಬಡಿದು ಆಯುಧವಾಗಿಸಿವೆ, ಮರಕ್ಕೆ ರೂಪ ಕೊಟ್ಟು ಬಾಗಿಲಾಗಿಸಿವೆ, ಮಣ್ಣಿಗೆ ಜೀವ ತುಂಬಿ ಮಡಕೆಯಾಗಿಸಿವೆ; ಹಾಗೆಯೇ ಬಣ್ಣಗಳ ಮೂಲಕ ಅಚ್ಚಳಿಯದ ಭಾವನೆಗಳನ್ನು ಮೂಡಿಸಿವೆ. ಆ ಸೃಷ್ಟಿಶೀಲ ಕೈಗಳಿಗೆ ಬಹುಶಃ ಇತಿಹಾಸದ ಅಧಿಕೃತ ಪುಟಗಳಲ್ಲಿ, ರಾಜ-ಮಹಾರಾಜರ ಕಥೆಗಳ ನಡುವೆ ದೊಡ್ಡ ಅಕ್ಷರಗಳಲ್ಲಿ ಹೆಸರು ಸಿಕ್ಕಿಲ್ಲದಿರಬಹುದು. ಆದರೆ ಅವರು ನಿರ್ಮಿಸಿದ ಕಲೆ, ಶಿಲ್ಪ, ವಾಸ್ತು, ಉಪಕರಣ ಮತ್ತು ಸೌಂದರ್ಯವೇ ನಮ್ಮ ನಾಗರಿಕತೆಯ ಉಸಿರಾಗಿ, ಜೀವಂತ ಸಾಕ್ಷಿಗಳಾಗಿ ಇಂದಿಗೂ ಉಳಿದಿವೆ. ಅಂತಹ ಸೃಜನಶೀಲ ಕೈಗಳ ಸಮೂಹ ಸ್ಮೃತಿಯನ್ನು, ಪರಂಪರೆಯನ್ನು ಮತ್ತು ಇತಿಹಾಸವನ್ನು ಅರಿಯುವ ಅರ್ಥಪೂರ್ಣ ಪ್ರಯತ್ನವನ್ನು ನಿರಾಕಾರ ವಿಶ್ವಕರ್ಮ ಕೃತಿಯಲ್ಲಿ ಲೇಖಕರಾದ ಚಂದ್ರಶೇಖರ ಗಂಧನಹಳ್ಳಿ ಅವರು ಮಾಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!
ಸುದ್ದಿದಿನ, ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆ ತನ್ನ 3 ವರ್ಷಗಳ ಸಾರ್ಥಕ ಪಯಣವನ್ನು ಪೂರ್ಣಗೊಳಿಸಿದೆ. `ಕುಟುಂಬಗಳ ಆರ್ಥಿಕ ಸಬಲೀಕರಣಕ್ಕೆ ಸಹಕಾರ’ ಎಂಬ ಧ್ಯೇಯದೊಂದಿಗೆ ಆರಂಭವಾದ ಈ ಯೋಜನೆ ಇಂದು ಕೋಟ್ಯಂತರ ಕುಟುಂಬಗಳ ಬದುಕಿಗೆ ಬೆಳಕಾಗಿದೆ.
ಹೌದು! 2023ರ ಆಗಸ್ಟ್ನಲ್ಲಿ ಜಾರಿಗೆ ಬಂದ ಈ ಯೋಜನೆಯಡಿ ರಾಜ್ಯದ ಪ್ರತಿಯೊಂದು ಕುಟುಂಬಕ್ಕೂ ಪ್ರತಿ ತಿಂಗಳು 200 ಯೂನಿಟ್ಗಳವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದ್ದು, ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಮಾಸಿಕ ಬಜೆಟ್ಗೆ ದೊಡ್ಡ ಆಸರೆಯಾಗಿದೆ ಎಂದೇ ಹೇಳಬಹುದು.
http://Visit : www.suddidina.com
ಗೃಹಜ್ಯೋತಿ ಯೋಜನೆಯ ಸಾಧನೆಯ ಗಿರಿ:
ಇಂಧನ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ರಾಜ್ಯದ್ಯಂತ ಬರೋಬ್ಬರಿ 1.65 ಕೋಟಿ. ಫಲಾನುಭವಿಗಳು ಕುಟುಂಬಗಳು ಯೋಜನೆಯ ಪ್ರಯೋಜನ ಪಡೆದುಕೊಳ್ಳುತ್ತಿದ್ದರೆ, ಸೇವಾಸಿಂಧು ಪೋರ್ಟಲ್ನಲ್ಲಿ ಒಟ್ಟು 1,76,69,368 ಜನರು ನೋಂದಾಯಿಸಿಕೊಂಡಿದ್ದರೆ. ಒಟ್ಟು 2,06,65,451 ಗೃಹಬಳಕೆ ವಿದ್ಯುತ್ ಗ್ರಾಹಕರಿದ್ದಾರೆ. ಅಂದರೆ ಶೇ.85ಕ್ಕಿಂತ ಹೆಚ್ಚು ಗ್ರಾಹಕರು ಈ ಯೋಜನೆಯಡಿ ನೋಂದಾಯಿಸಿಕೊಂಡು ಲಾಭ ಪಡೆಯುತ್ತಿದ್ದಾರೆ.
ಆರ್ಥಿಕವಾಗಿ ನೋಡುವುದಾದರೆ, 2023ರ ಆಗಸ್ಟ್ನಿಂದ 2026ರ ಜುಲೈ ವರೆಗೆ, ಕಳೆದ ಮೂರು ವರ್ಷಗಳಲ್ಲಿ ಸರ್ಕಾರವು ಫಲಾನುಭವಿಗಳಿಗೆ ಒಟ್ಟು ₹28,759.54 ಕೋಟಿ ರೂಪಾಯಿ ಸಬ್ಸಿಡಿ ಬಿಡುಗಡೆ ಮಾಡಿದೆ. ಇದು ಸರ್ಕಾರದ ಬದ್ಧತೆ ಮತ್ತು ಜನಪರ ಕಾಳಜಿಗೆ ಹಿಡಿದ ಕನ್ನಡಿಯಾಗಿದೆ.
ಕುಟುಂಬದ ಬಜೆಟ್ಗೆ ಆಸರೆ, ಉಜ್ವಲ ಭವಿಷ್ಯಕ್ಕೆ ಬುನಾದಿ:
ಪ್ರತಿ ತಿಂಗಳು 1000 ದಿಂದ 1500 ರೂಪಾಯಿಗಳವರೆಗೆ ವಿದ್ಯುತ್ ಬಿಲ್ ಕಟ್ಟುತ್ತಿದ್ದ ಸಾಮಾನ್ಯ ಕುಟುಂಬಗಳಿಗೆ ಈಗ ಆ ಹಣ ಸಂಪೂರ್ಣವಾಗಿ ಉಳಿತಾಯವಾಗುತ್ತಿದೆ. ಈ ಉಳಿತಾಯದ ಹಣವನ್ನು ಅವರು ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ಇತರ ಅಗತ್ಯಗಳಿಗೆ ಬಳಸಿಕೊಳ್ಳುತ್ತಿದ್ದಾರೆ. ವಿಶೇಷವಾಗಿ ಗೃಹಿಣಿಯರಿಗೆ ಇದು ಆರ್ಥಿಕವಾಗಿ ದೊಡ್ಡ ನೆರವಾಗಿದೆ.
ಕೇವಲ ಉಚಿತ ವಿದ್ಯುತ್ ನೀಡುವುದಷ್ಟೇ ಅಲ್ಲ, ಜನರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವುದೇ ಈ ಯೋಜನೆಯ ಮುಖ್ಯ ಗುರಿಯಾಗಿದ್ದು, ರಾಜ್ಯದ ಜನರ ಜೀವನಮಟ್ಟ ಸುಧಾರಿಸಿದೆ. ಗೃಹ ಜ್ಯೋತಿ ಯೋಜನೆಯು ಕೇವಲ ಒಂದು ಯೋಜನೆಯಾಗಿ ಉಳಿಯದೆ, ಕರ್ನಾಟಕದ ಸಾಮಾಜಿಕ ಮತ್ತು ಆರ್ಥಿಕ ಪರಿವರ್ತನೆಯಲ್ಲಿ ಮಹತ್ವದ ಮೈಲಿಗಲ್ಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕುಟುಂಬಗಳನ್ನು ಈ ಯೋಜನೆಯಡಿ ತರಲು ಇಂಧನ ಇಲಾಖೆ ಕ್ರಮ ಕೈಗೊಳ್ಳುತ್ತಿದೆ.




