ದಿನದ ಸುದ್ದಿ
ಭದ್ರೆ ಆಗಮನದಿಂದ ರೈತರಲ್ಲಿ ಹೊಸ ಭರವಸೆ – ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ
ಸುದ್ದಿದಿನ,ಚಿತ್ರದುರ್ಗ: ಜಿಲ್ಲೆಯ ಬಹುದಿನಗಳ ನೀರಾವರಿ ಕನಸಾಗಿರುವ ಭದ್ರಾ ಮೇಲ್ದಂಡೆ ಯೋಜನೆಯ ನೀರು ಚಿತ್ರದುರ್ಗ ಜಿಲ್ಲೆಗೆ ಹರಿದುಬಂದಿರುವುದು ರೈತರಲ್ಲಿ ಹೊಸ ಭರವಸೆ ಮೂಡಿಸಿದೆ. ಜಿಲ್ಲೆಯ ಬರಪೀಡಿತ ಪ್ರದೇಶಗಳಿಗೆ ನೀರಾವರಿ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ರೂಪಿಸಲಾಗಿರುವ ಈ ಯೋಜನೆಯ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಂಡಿದೆ ಎಂದು ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಹೇಳಿದರು.
http://Visit : www.suddidina.com
ಭದ್ರಾ ಮೇಲ್ದಂಡೆ ಯೋಜನೆ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ವಿಶೇಷ ಕಾಳಜಿ ವಹಿಸಿದ್ದು, ಚಿತ್ರದುರ್ಗ ಜಿಲ್ಲೆಗೆ ಭದ್ರಾ ನೀರು ತಲುಪಿಸುವ ನಿಟ್ಟಿನಲ್ಲಿ ಅಗತ್ಯ ಸಹಕಾರ ಹಾಗೂ ಮಾರ್ಗದರ್ಶನ ನೀಡುತ್ತಿದ್ದಾರೆ. ಹಲವು ವರ್ಷಗಳಿಂದ ಭದ್ರಾ ನೀರಿಗಾಗಿ ಕಾಯುತ್ತಿದ್ದ ಜಿಲ್ಲೆಯ ರೈತರಿಗೆ ನೀರು ಹರಿದುಬಂದಿರುವುದು ಸಂತಸದ ಸಂಗತಿಯಾಗಿದೆ. ಇದರಿಂದ ರೈತರ ಮುಖದಲ್ಲಿ ಮಂದಹಾಸ ಮೂಡಿದ್ದು, ಜಿಲ್ಲೆಯ ನೀರಾವರಿ ಕ್ಷೇತ್ರದಲ್ಲಿ ಹೊಸ ಅಧ್ಯಾಯ ಆರಂಭವಾಗುವ ನಿರೀಕ್ಷೆ ಇದೆ ಎಂದು ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಅವರು ತಿಳಿಸಿದ್ದಾರೆ.
ಭದ್ರಾ ಮೇಲ್ದಂಡೆ ಯೋಜನೆಯ ಪ್ರಮುಖ ಉದ್ದೇಶಗಳಲ್ಲಿ ಬರಪೀಡಿತ ಪ್ರದೇಶಗಳಿಗೆ ನೀರಾವರಿ ಸೌಲಭ್ಯ ಕಲ್ಪಿಸುವುದು ಹಾಗೂ ಕೆರೆಗಳಿಗೆ ನೀರು ತುಂಬಿಸುವ ಮೂಲಕ ಅಂತರ್ಜಲ ಮಟ್ಟವನ್ನು ಹೆಚ್ಚಿಸುವುದು ಪ್ರಮುಖವಾಗಿದೆ. ಚಿತ್ರದುರ್ಗ ಜಿಲ್ಲೆಯ ಹಲವು ಪ್ರದೇಶಗಳಲ್ಲಿ ಮಳೆಯ ಪ್ರಮಾಣ ಕಡಿಮೆ ಇರುವುದರಿಂದ ಕೃಷಿ ಚಟುವಟಿಕೆಗಳು ಮಳೆಯನ್ನೇ ಅವಲಂಬಿಸಿವೆ. ಇಂತಹ ಸಂದರ್ಭದಲ್ಲಿ ಭದ್ರಾ ನೀರು ಜಿಲ್ಲೆಯ ಕೆರೆಗಳಿಗೆ ಲಭ್ಯವಾದರೆ ರೈತರಿಗೆ ಸ್ಥಿರವಾದ ನೀರಿನ ಮೂಲ ದೊರೆಯುವಂತಾಗಲಿದೆ ಎಂದರು.
ಕೆರೆಗಳಿಗೆ ನೀರು ಹರಿದುಬಂದಾಗ ಕೇವಲ ಕೆರೆಗಳೇ ತುಂಬುವುದಲ್ಲದೆ, ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅಂತರ್ಜಲ ಮರುಪೂರಣಕ್ಕೂ ಸಹಕಾರಿಯಾಗಲಿದೆ. ಇದರಿಂದ ಕೊಳವೆಬಾವಿ ಹಾಗೂ ತೆರೆದ ಬಾವಿಗಳಲ್ಲಿ ನೀರಿನ ಲಭ್ಯತೆ ಹೆಚ್ಚುವ ಸಾಧ್ಯತೆ ಇದ್ದು, ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗಲಿದೆ. ನೀರಾವರಿ ವಿಸ್ತರಣೆಯಾದರೆ ರೈತರು ವಿವಿಧ ಬೆಳೆಗಳನ್ನು ಬೆಳೆಯಲು ಅವಕಾಶ ದೊರೆಯುವುದರ ಜೊತೆಗೆ ಕೃಷಿ ಆಧಾರಿತ ಆರ್ಥಿಕ ಚಟುವಟಿಕೆಗಳಿಗೂ ಉತ್ತೇಜನ ಸಿಗಲಿದೆ ಎಂದು ಅವರು ಹೇಳಿದರು.
ರೈತರ ಬಹುದಿನಗಳ ನಿರೀಕ್ಷೆಗೆ ಸ್ಪಂದನೆ
ಭದ್ರಾ ಮೇಲ್ದಂಡೆ ಯೋಜನೆಗಾಗಿ ಜಿಲ್ಲೆಯ ರೈತರು ಹಾಗೂ ವಿವಿಧ ಸಂಘಟನೆಗಳು ಹಲವು ವರ್ಷಗಳಿಂದ ಹೋರಾಟ ನಡೆಸಿಕೊಂಡು ಬಂದಿವೆ. ನೀರಿನ ಸಮಸ್ಯೆಯಿಂದ ಸಂಕಷ್ಟ ಎದುರಿಸುತ್ತಿರುವ ರೈತರಿಗೆ ಈ ಯೋಜನೆ ಆಶಾಕಿರಣವಾಗಿದೆ. ಯೋಜನೆಯ ನೀರು ನಿಗದಿತ ಪ್ರದೇಶಗಳಿಗೆ ಸಮರ್ಪಕವಾಗಿ ತಲುಪುವಂತೆ ಕಾಮಗಾರಿಗಳ ಪ್ರಗತಿ, ಕಾಲುವೆ ವ್ಯವಸ್ಥೆ ಹಾಗೂ ನೀರು ಹಂಚಿಕೆ ವ್ಯವಸ್ಥೆಯ ಮೇಲೆ ಸಂಬಂಧಪಟ್ಟ ಅಧಿಕಾರಿಗಳು ನಿರಂತರ ನಿಗಾ ವಹಿಸಬೇಕು, ಚಿತ್ರದುರ್ಗ ಜಿಲ್ಲೆಯ ಕೃಷಿ ಅಭಿವೃದ್ಧಿಗೆ ನೀರಾವರಿ ಅತ್ಯಂತ ಪ್ರಮುಖವಾಗಿದೆ. ಮಳೆಯ ಅನಿಶ್ಚಿತತೆ ಹಾಗೂ ಬರಗಾಲದ ಪರಿಸ್ಥಿತಿಯಿಂದ ರೈತರು ಪದೇಪದೇ ಸಂಕಷ್ಟಕ್ಕೆ ಒಳಗಾಗುತ್ತಿದ್ದಾರೆ. ಭದ್ರಾ ನೀರು ಲಭ್ಯವಾದಲ್ಲಿ ಕೃಷಿ ಉತ್ಪಾದಕತೆ ಹೆಚ್ಚುವುದರ ಜೊತೆಗೆ ರೈತರ ಆದಾಯವನ್ನೂ ಸುಧಾರಿಸಲು ಸಹಕಾರಿಯಾಗಲಿದೆ ಇಂದು ಅಭಿಪ್ರಾಯ ತಿಳಿಸಿದ್ದಾರೆ.
ಕುಡಿಯುವ ನೀರಿಗೂ ಅನುಕೂಲ
ಭದ್ರಾ ಮೇಲ್ದಂಡೆ ಯೋಜನೆಯಿಂದ ಕೆರೆಗಳು ಹಾಗೂ ಜಲಮೂಲಗಳಿಗೆ ನೀರು ಲಭ್ಯವಾದರೆ ಗ್ರಾಮೀಣ ಪ್ರದೇಶಗಳ ಕುಡಿಯುವ ನೀರಿನ ಸಮಸ್ಯೆ ನಿವಾರಣೆಯಲ್ಲಿಯೂ ಪರೋಕ್ಷವಾಗಿ ಸಹಕಾರಿಯಾಗಲಿದೆ. ಬೇಸಿಗೆ ಸಂದರ್ಭದಲ್ಲಿ ನೀರಿನ ಮೂಲಗಳು ಬತ್ತಿಹೋಗುವುದರಿಂದ ಎದುರಾಗುವ ಸಮಸ್ಯೆಯನ್ನು ಕಡಿಮೆ ಮಾಡಲು ಜಲಮೂಲಗಳ ಸಂರಕ್ಷಣೆ ಹಾಗೂ ಅಂತರ್ಜಲ ಮಟ್ಟ ಸುಧಾರಣೆ ಅಗತ್ಯವಾಗಿದೆ ಎಂದು ಅವರು ತಿಳಿಸಿದರು.
ಯೋಜನೆಯ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ, ನೀರು ನಿಗದಿತ ಪ್ರದೇಶಗಳಿಗೆ ಸಮರ್ಪಕವಾಗಿ ತಲುಪುವಂತೆ ಸರ್ಕಾರ ಮತ್ತು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ನೀರಿನ ಬಳಕೆಯಲ್ಲಿ ವೈಜ್ಞಾನಿಕ ನಿರ್ವಹಣೆ, ಕೆರೆಗಳ ಸಂರಕ್ಷಣೆ ಹಾಗೂ ನೀರು ವ್ಯರ್ಥವಾಗದಂತೆ ಕ್ರಮವಹಿಸುವುದು ಕೂಡ ಅಷ್ಟೇ ಮುಖ್ಯವಾಗಿದೆ ಎಂದರು.
ಭದ್ರಾ ಮೇಲ್ದಂಡೆ ಯೋಜನೆ ಪೂರ್ಣ ಪ್ರಮಾಣದಲ್ಲಿ ಅನುಷ್ಠಾನಗೊಂಡು ಜಿಲ್ಲೆಯ ಕೆರೆಗಳಿಗೆ ಸಮರ್ಪಕವಾಗಿ ನೀರು ಲಭ್ಯವಾದರೆ ಚಿತ್ರದುರ್ಗ ಜಿಲ್ಲೆಯ ಕೃಷಿ ಕ್ಷೇತ್ರದಲ್ಲಿ ಮಹತ್ವದ ಬದಲಾವಣೆ ಸಾಧ್ಯವಾಗಲಿದೆ. ರೈತರ ಬಹುದಿನಗಳ ನೀರಿನ ನಿರೀಕ್ಷೆ ಈಡೇರುವುದರ ಜೊತೆಗೆ ಮಧ್ಯ ಕರ್ನಾಟಕದ ಅಭಿವೃದ್ಧಿಗೂ ಯೋಜನೆ ಹೊಸ ವೇಗ ನೀಡಲಿದೆ. ಈ ನಿಟ್ಟಿನಲ್ಲಿ ಸರ್ಕಾರದೊಂದಿಗೆ ಜನಪ್ರತಿನಿಧಿಗಳು, ಹೋರಾಟಗಾರರು ಸಂಘ ಸಂಸ್ಥೆಗಳು ಹಾಗೂ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಿದ್ದಾರೆ ಅದರ ಅನ್ವಯವಾಗಿ ಚಿತ್ರದುರ್ಗ ಜಿಲ್ಲೆಗೆ ಹರಿದು ಬಂದಿದ್ದಾಳೆ ಎಂದು ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ತಿಳಿಸಿದ್ದಾರೆ.

ದಿನದ ಸುದ್ದಿ
ಮಾಹಿತಿ ಹಕ್ಕು ಅರ್ಜಿ ಸಲ್ಲಿಕೆ ಇನ್ಮುಂದೆ ಮತ್ತಷ್ಟು ಸುಲಭ: ‘ಸಕಾಲ’ ಸೇವೆಗೆ ಭೌತಿಕ ಆರ್‌ಟಿಐ ಅರ್ಜಿಗಳ ಸೇರ್ಪಡೆ, ಗ್ರಾಮ ಒನ್‌ನಲ್ಲೂ ಲಭ್ಯ
ಸುದ್ದಿದಿನ,ಬೆಂಗಳೂರು: ನಾಗರಿಕರಿಗೆ ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯನ್ನು ಇನ್ನಷ್ಟು ಸುಲಭವಾಗಿ ಬಳಸಲು ಹಾಗೂ ವ್ಯವಸ್ಥೆಯಲ್ಲಿ ಹೆಚ್ಚಿನ ಪಾರದರ್ಶಕತೆ ತರಲು ಕರ್ನಾಟಕ ಸರ್ಕಾರವು ಮಾನ್ಯ ಮುಖ್ಯಮಂತ್ರಿಯವರ ಅನುಮೋದನೆಯೊಂದಿಗೆ ಎರಡು ಪ್ರಮುಖ ಹಾಗೂ ನೂತನ ನಿರ್ಧಾರಗಳನ್ನು ಕೈಗೊಂಡಿದೆ.
ಭೌತಿಕ ಆರ್‌ಟಿಐ ಅರ್ಜಿಗಳ ದಾಖಲಾತಿ ಈಗ ‘ಸಕಾಲ’ ಸೇವೆ
ಅಂಚೆ ಅಥವಾ ಖುದ್ದಾಗಿ ಸಲ್ಲಿಸುವ ಭೌತಿಕ (ಕಾಗದದ ರೂಪದ) ಆರ್‌ಟಿಐ ಅರ್ಜಿಗಳನ್ನು ಸ್ವೀಕರಿಸಿದ ಸಾರ್ವಜನಿಕ ಪ್ರಾಧಿಕಾರವು 2 ದಿನಗಳ ಒಳಗಾಗಿ ಆರ್‌ಟಿಐ ಆನ್‌ಲೈನ್ ಪೋರ್ಟಲ್‌ನಲ್ಲಿ ಕಡ್ಡಾಯವಾಗಿ ದಾಖಲಿಸಬೇಕು.
ಇದನ್ನು ಕರ್ನಾಟಕ ಸಕಾಲ ಸೇವೆಗಳ ಅಧಿನಿಯಮ 2011 ರ ಅಡಿಯಲ್ಲಿ ಖಾತ್ರಿ ಸೇವೆಯಾಗಿ ಅಧಿಸೂಚಿಸಲಾಗಿದೆ. ಇದರಿಂದ ಪ್ರತಿಯೊಬ್ಬ ಅರ್ಜಿದಾರರಿಗೂ ಆನ್‌ಲೈನ್ ನೋಂದಣಿ ಸಂಖ್ಯೆ ದೊರೆಯಲಿದ್ದು, ಅರ್ಜಿಯ ಸ್ಥಿತಿಗತಿಯನ್ನು (Status) ಯಾವಾಗ ಬೇಕಾದರೂ ಪರಿಶೀಲಿಸಬಹುದು.
ಅರ್ಜಿಗಳು ಕಳೆದುಹೋಗುವ ಅಥವಾ ನಿರ್ಲಕ್ಷ್ಯಕ್ಕೆ ಒಳಗಾಗುವ ಸಾಧ್ಯತೆ ಇರುವುದಿಲ್ಲ. ನಿಯಮಿತ ۲ ದಿನಗಳಲ್ಲಿ ಪೋರ್ಟಲ್‌ನಲ್ಲಿ ದಾಖಲಿಸದಿದ್ದರೆ ನಾಗರಿಕರು ಸಕಾಲ ಕಾಯ್ದೆಯಡಿ ಪರಿಹಾರ ವೆಚ್ಚ ಪಡೆಯಲು ಅರ್ಹರಾಗಿರುತ್ತಾರೆ ಹಾಗೂ ಸಂಬಂಧಪಟ್ಟ ಅಧಿಕಾರಿಯೇ ಇದಕ್ಕೆ ಹೊಣೆಗಾರರಾಗುತ್ತಾರೆ.
ಎಲ್ಲಾ ಒನ್ ಕೇಂದ್ರಗಳಲ್ಲಿ ಆನ್‌ಲೈನ್ ಆರ್‌ಟಿಐ ಸೇವೆ ಲಭ್ಯ
ಇಂಟರ್ನೆಟ್ ಅಥವಾ ಕಂಪ್ಯೂಟರ್ ಬಳಕೆ ತಿಳಿಯದ ಸಾರ್ವಜನಿಕರನು ದೃಷ್ಟಿಯಲ್ಲಿಟ್ಟುಕೊಂಡು, ರಾಜ್ಯದ ಎಲ್ಲಾ ಬೆಂಗಳೂರು ಒನ್, ಕರ್ನಾಟಕ ಒನ್ ಮತ್ತು ಗ್ರಾಮ ಒನ್ ಕೇಂದ್ರಗಳಲ್ಲಿ ಆನ್‌ಲೈನ್ ಆರ್‌ಟಿಐ ಅರ್ಜಿ ಸಲ್ಲಿಸುವ ಸೌಲಭ್ಯವನ್ನು ವಿಸ್ತರಿಸಲಾಗಿದೆ.
ನಾಗರಿಕರು ತಮ್ಮ ಸಮೀಪದ ಕೇಂದ್ರಕ್ಕೆ ತೆರಳಿ ಸಿಬ್ಬಂದಿಯ ನೆರವಿನಿಂದ ಅರ್ಜಿ ಸಲ್ಲಿಸಬಹುದು.
ನಿಗದಿತ ಆರ್‌ಟಿಐ ಶುಲ್ಕ ಮತ್ತು ಕೇಂದ್ರದ ನಾಮಮಾತ್ರ ಸೇವಾ ಶುಲ್ಕವನ್ನು ಪಾವತಿಸಿ, ಸ್ಥಳದಲ್ಲೇ ಆನ್‌ಲೈನ್ ಸ್ವೀಕೃತಿ (Acknowledgement) ಪಡೆಯಬಹುದು.
ಗ್ರಾಮ ಪಂಚಾಯಿತಿ ಮಟ್ಟದ ‘ಗ್ರಾಮ ಒನ್’ ಕೇಂದ್ರಗಳ ಮೂಲಕ ಈಗ ಹಳ್ಳಿಯ ಪ್ರತಿಯೊಬ್ಬ ನಾಗರಿಕರಿಗೂ ಆನ್‌ಲೈನ್ ಆರ್‌ಟಿಐ ಸೌಲಭ್ಯ ತಲುಪಿದೆ.
ಪ್ರಮುಖ ಪ್ರಯೋಜನಗಳು
ಏಕರೂಪದ ವೇದಿಕೆ: ಭೌತಿಕ, ಆನ್‌ಲೈನ್ ಅಥವಾ ಸೇವಾ ಕೇಂದ್ರಗಳ ಮೂಲಕ ಬರುವ ಎಲ್ಲಾ ಅರ್ಜಿಗಳು ಒಂದೇ ವೇದಿಕೆಯಡಿ ಬರಲಿವೆ. ಪಾರದರ್ಶಕತೆ: ಆರ್‌ಟಿಐ ಕಾಯ್ದೆ 2005ರ ಕಾಲಮಿತಿಗಳ ಪಾಲನೆಯನ್ನು ಸುಲಭವಾಗಿ ಮೇಲ್ವಿಚಾರಣೆ ಮಾಡಬಹುದು.
ಇದರಿಂದ ಮಾಹಿತಿ ಅಧಿಕಾರಿಗಳಿಂದಾಗುವ ವಿಳಂಬವನ್ನು ಶೀಘ್ರವಾಗಿ ಗುರುತಿಸಬಹುದು.
ನಾಗರಿಕರಿಗೆ ತಮ್ಮ ಅರ್ಜಿಗಳ ವಿಶ್ವಾಸಾರ್ಹ ದಾಖಲೆ ಲಭ್ಯವಾಗುತ್ತದೆ.
ಸಾರ್ವಜನಿಕರು ನೇರವಾಗಿ ಆನ್‌ಲೈನ್‌ನಲ್ಲಾಗಲಿ ಅಥವಾ ತಮ್ಮ ಸಮೀಪದ ಸೇವಾ ಕೇಂದ್ರಗಳ (ಬೆಂಗಳೂರು ಒನ್/ಕರ್ನಾಟಕ ಒನ್/ಗ್ರಾಮ ಒನ್) ಮೂಲಕವಾಗಲಿ ಅರ್ಜಿ ಸಲ್ಲಿಸಿ ಈ ಸೌಲಭ್ಯದ ಗರಿಷ್ಠ ಪ್ರಯೋಜನ ಪಡೆದುಕೊಳ್ಳಲು ಅನುಕೂಲವಾಗಲಿದೆ ಎಂದು ಪ್ರಜಾ ಸೇವಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತ ಅವರು ಹೊರಡಿಸಿರುವ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದಿನದ ಸುದ್ದಿ
ಕೆ.ಆರ್.ಐ.ಡಿ.ಎಲ್, ಮಾಯಕೊಂಡ ವ್ಯಾಪ್ತಿ ; 20 ಕೋಟಿ ಅನುದಾನ : ತನಿಖೆಗೆ ಒಳಪಡಿಸಲು ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲಾ ಕೆಆರ್.ಐ.ಡಿ.ಎಲ್ ವಿಭಾಗ-2ರ ವ್ಯಾಪ್ತಿಗೆ 2023-24ನೇ ಸಾಲಿನಲ್ಲಿ ಮಾನ್ಯ ಮುಖ್ಯಮಂತ್ರಿಗಳ ವಿಶೇಷ ಮಂಜೂರಾತಿ ಕಾರ್ಯಕ್ರಮದಡಿ ದಾವಣಗೆರೆ ಜಿಲ್ಲೆ ಮಾಯಕೊಂಡ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಬಿಡುಗಡೆಯಾದ ರೂ. 20 ಕೋಟಿ ಮೊತ್ತದ 51 ಕಾಮಗಾರಿಗಳನ್ನು ಸೂಕ್ತ ತನಿಖೆಗೆ ಒಳಪಡಿಸುವಂತೆ ದೂರು ನೀಡಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಮಾಯಕೊಂಡ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ 2023-24ನೇ ಸಾಲಿನಲ್ಲಿ ಬಿಡುಗಡೆಯಾಗಿರುವ ರೂ. 20 ಕೋಟಿ ಅನುದಾನದಲ್ಲಿ ನಡೆದಿರುವ 51 ಕಾಮಗಾರಿಗಳ ಬಗ್ಗೆ ಅನುಮಾನ ಕಂಡುಬಂದಿದ್ದು, ಮಾಹಿತಿಹಕ್ಕು ಅಡಿಯಲ್ಲಿ ದಾಖಲೆ ಕೋರಿದಾಗ ಬಹುತೇಕ ಕಾಮಗಾರಿಗಳು ನಡೆದಿರುವುದಿಲ್ಲ ಎಂಬುದಾಗಿ ಹಿಂಬರಹ ನೀಡಿರುತ್ತಾರೆ. ಹೀಗಾಗಿ 51 ಕಾಮಗಾರಿಗೆ ಸಂಬಂಧಿಸಿದಂತೆ ನಿತೀನ್ ಎಸ್. ಜಾಧವ್, ಸಹಾಯಕ ಕಾರ್ಯಪಾಲಕ ಅಭಿಯಂತರು, ಕೆ.ಆರ್.ಐ.ಡಿ.ಎಲ್, ಮಾಯಕೊಂಡ ಇವರ ವಿರುದ್ಧ ಪ್ರಕರಣ ದಾಖಲಿಸಿ ರೂ. 20 ಕೋಟಿ ಮೊತ್ತದಲ್ಲಿ ನಡೆದಿರುವ 51 ಕಾಮಗಾರಿಗಳನ್ನು ನಿಯಮಾನುಸಾರ ತನಿಖೆಗೆ ಒಳಪಡಿಸುವಂತೆ ದೂರು ನೀಡಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ದಿನದ ಸುದ್ದಿ
ಕಾಲೇಜು ಶಿಕ್ಷಣ ಇಲಾಖೆ ಆಯುಕ್ತೆ ಮಂಜುಶ್ರೀ, ಉನ್ನತ ಶಿಕ್ಷಣ ಇಲಾಖೆ ಕಾರ್ಯದರ್ಶಿ ಖುಷ್ಬೂ ಗೋಯಲ್ ಚೌದರಿ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ:ಕಾಲೇಜು ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿ ದ್ವಿತೀಯ ದರ್ಜೆ ಸಹಾಯಕರಿಂದ ಪ್ರಥಮ ದರ್ಜೆ ಸಹಾಯಕ ಹುದ್ದೆಗೆ ನೀಡಿರುವ ಮುಂಬಡ್ತಿಯ ಸ್ಥಳ ನಿಯುಕ್ತಿಗೆ ಸಂಬAಧಿಸಿದ ಆನ್‌ಲೈನ್ ಕೌನ್ಸಿಲಿಂಗ್‌ನಲ್ಲಿ ಪಾರದರ್ಶಕತೆಯನ್ನು ಉಲ್ಲಂಘಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪದ ಅಡಿಯಲ್ಲಿ ಕಾಲೇಜು ಶಿಕ್ಷಣ ಇಲಾಖೆಯ ಹಿಂದಿನ ಆಯುಕ್ತೆ ಮಂಜುಶ್ರೀ, ಉನ್ನತ ಶಿಕ್ಷಣ ಇಲಾಖೆ ಕಾರ್ಯದರ್ಶಿ ಖುಷ್ಬೂ ಗೋಯಲ್ ಚೌದರಿ ವಿರುದ್ಧ ಲೋಕಾಯುಕ್ತಗೆ ದೂರು ನೀಡಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಕಾಲೇಜು ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳನ್ನು ಸೇವಾ ಜೇಷ್ಠತೆ ಹಾಗೂ ಅರ್ಹತೆ ಆಧಾರದ ಮೇಲೆ ಅರ್ಹ ದ್ವಿತೀಯ ದರ್ಜೆ ಸಹಾಯಕರ ವೃಂದದಿAದ ಮುಂಬಡ್ತಿ ಮೂಲಕ ಭರ್ತಿ ಮಾಡಲು ಮುಂದಾಗಿದ್ದು, ಖಾಲಿ ಇರುವ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ಸಂಖ್ಯೆಗೆ ಅನುಗುಣವಾಗಿ ದಿನಾಂಕ: 12-11-2025 ರಂದು ಆನ್‌ಲೈನ್ ಕೌನ್ಸಿಲಿಂಗ್ ನಡೆಸಿ, ಸ್ಥಳ ನಿಯುಕ್ತಿ ಮಾಡಿ, ಕೌನ್ಸಿಲಿಂಗ್ ಮೂಲಕ ಸ್ಥಳ ಆಯ್ಕೆ ಮಾಡಿಕೊಂಡ ಪ್ರಥಮ ದರ್ಜೆ ಸಹಾಯಕರ ಪಟ್ಟಿಯನ್ನು ಬಿಡುಗಡೆಗೊಸಲಾಗಿರುತ್ತದೆ.
ಆದರೆ ಕಾಲೇಜು ಶಿಕ್ಷಣ ಇಲಾಖೆಯಿಂದ ಹೊರಡಿಸಿರುವ ಪಟ್ಟಿಯಲ್ಲಿ ಆಯುಕ್ತರ ಕಛೇರಿ, ಬೆಂಗಳೂರು ಇಲ್ಲಿ 03 ಖಾಲಿ ಇರುವ ಪ್ರಥಮ ದರ್ಜೆ ಸಹಾಯಕರ ಹುದ್ದೆಯನ್ನು ಗುರುತಿಸಲಾಗಿರುತ್ತದೆ. ಆದರೆ ಆದೇಶ ಪ್ರತಿಯಲ್ಲಿ ದ್ವಿತೀಯ ದರ್ಜೆ ಸಹಾಯಕರಿಂದ ಪ್ರಥಮ ದರ್ಜೆ ಸಹಾಯಕರ ಮುಂಬಡ್ತಿಯಲ್ಲಿ 10 ಪ್ರಥಮ ದರ್ಜೆ ಸಹಾಯಕರ ಹುದ್ದೆಗೆ ಅವಕಾಶ ಕಲ್ಪಿಸಲಾಗಿದೆ. ಕೇಂದ್ರ ಕಛೇರಿ, ಬೆಂಗಳೂರು ಇಲ್ಲಿಗೆ ಆಯ್ಕೆ ಮಾಡಿಕೊಂಡಿರುವ 10 ಅಭ್ಯರ್ಥಿಗಳಲ್ಲಿ 05 ಅಭ್ಯರ್ಥಿಗಳನ್ನು ದ್ವಿತೀಯ ದರ್ಜೆ ಸಹಾಯಕರಿಂದ ಪ್ರಥಮ ದರ್ಜೆ ಸಹಾಯಕರ ಹುದ್ದೆಗೆ ಮುಂಬಡ್ತಿ ನೀಡಿ ಯಥಾ ಪ್ರಕಾರ ಮುಂದುವರೆಸಲಾಗಿರುತ್ತದೆ.
ಹೀಗಾಗಿ ಸದರಿ ಮುಂಬಡ್ತಿ ಪ್ರಕ್ರಿಯೆಯು ನಿಯಮಬಾಹಿರವಾಗಿದ್ದು ಸೂಕ್ತ ಕ್ರಮ ಕೈಗೊಳ್ಳುವಂತೆ ದೂರು ನೀಡಿ 10 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದ ಕಾಲೇಜು ಶಿಕ್ಷಣ ಇಲಾಖೆಯ ಹಿಂದಿನ ಆಯುಕ್ತೆ ಮಂಜುಶ್ರೀ, ಉನ್ನತ ಶಿಕ್ಷಣ ಇಲಾಖೆ ಕಾರ್ಯದರ್ಶಿ ಖುಷ್ಬೂ ಗೋಯಲ್ ಚೌದರಿ ವಿರುದ್ಧ ದೂರು ನೀಡಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ಮಾಹಿತಿ ನೀಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243





