ದಿನದ ಸುದ್ದಿ
ಉತ್ತರಾಖಂಡ್ ನಲ್ಲಿ ಭೀಕರ ಬಸ್ ಅಪಘಾತ; 26 ಯಾತ್ರಾರ್ಥಿಗಳು ಸಾವು; ಮೃತರ ಕುಟುಂಬಸ್ಥರಿಗೆ ತಲಾ 2 ಲಕ್ಷ ಪರಿಹಾರ ಘೋಷಣೆ
ಸುದ್ದಿದಿನ ಡೆಸ್ಕ್ : ಉತ್ತರಾಖಂಡದಲ್ಲಿ ಸಂಭವಿಸಿದ ಬಸ್ ಅಪಘಾತ ನೋವಿನ ಸಂಗತಿ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಅಪಘಾತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬ ಸದಸ್ಯರಿಗೆ ಸಂತಾಪ ಸೂಚಿಸಿದ್ದಾರೆ. ರಾಜ್ಯ ಸರ್ಕಾರದ ಮೇಲ್ವಿಚಾರಣೆಯಲ್ಲಿ, ಸ್ಥಳೀಯ ಆಡಳಿತವು ಸ್ಥಳದಲ್ಲೇ ಸಾಧ್ಯವಿರುವ ಎಲ್ಲಾ ಸಹಾಯವನ್ನು ಒದಗಿಸುವಲ್ಲಿ ತೊಡಗಿದೆ ಎಂದು ಅವರು ಹೇಳಿದ್ದಾರೆ.
ಅಪಘಾತದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಕ್ಕೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ ಪಿ.ಎಂ.ಎನ್.ಆರ್.ಎಫ್.ನಿಂದ ತಲಾ ಎರಡು ಲಕ್ಷ ಹಾಗೂ ಗಾಯಗೊಂಡವರಿಗೆ ತಲಾ 50 ಸಾವಿರ ರೂಪಾಯಿಗಳ ಪರಿಹಾರವನ್ನು ಪ್ರಧಾನಿ ಘೋಷಿಸಿದ್ದಾರೆ.
ಏತನ್ಮಧ್ಯೆ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಉತ್ತರಾಖಂಡದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರೊಂದಿಗೆ ಮಾತನಾಡಿದ್ದಾರೆ. ಸ್ಥಳೀಯ ಆಡಳಿತ ಮತ್ತು ಎಸ್ ಡಿಆರ್ ಎಫ್ ತಂಡಗಳು ರಕ್ಷಣಾ ಕಾರ್ಯದಲ್ಲಿ ತೊಡಗಿವೆ ಮತ್ತು ಗಾಯಾಳುಗಳನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿದೆ ಎಂದು ಶಾ ಟ್ವೀಟ್ ಮಾಡಿದ್ದಾರೆ.
ಯಮುನೋತ್ರಿಗೆ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ಸೊಂದು ಕಳೆದ ಸಂಜೆ ದಮ್ಟಾ ಎಂಬಲ್ಲಿ ಉರುಳಿಬಿದ್ದಿ ಪರಿಣಾಮ ಕನಿಷ್ಠ 26 ಯಾತ್ರಾರ್ಥಿಗಳು ಮೃತಪಟ್ಟಿದ್ದು, ಇತರರು ಗಾಯಗೊಂಡಿದ್ದಾರೆ.
ಮಧ್ಯಪ್ರದೇಶದ ಪನ್ನಾ ಜಿಲ್ಲೆಯಿಂದ ಕನಿಷ್ಠ 32 ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್, ದಮ್ಟಾ ಮತ್ತು ಬರ್ನಿಗಡ್ ನಡುವಿನ ಯಮುನೋತ್ರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಉರುಳಿ ಬಿದ್ದಿದೆ. ಮುಖ್ಯಮಂತ್ರಿ ಪುಷ್ಕರ್ ಧಾಮಿ ಅವರು ಅಪಘಾತದ ಬಗ್ಗೆ ತನಿಖೆಗೆ ಆದೇಶಿಸಿದ್ದಾರೆ.
ಮಾಹಿತಿ ಬಂದ ತಕ್ಷಣ, ತ್ವರಿತ ಪರಿಹಾರ ಮತ್ತು ರಕ್ಷಣಾ ಕಾರ್ಯಕ್ಕಾಗಿ ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಲಾಗಿದೆ ಎಂದು ಅವರು ಟ್ವೀಟ್ ಮಾಡಿದ್ದಾರೆ. ಅಧಿಕೃತ ಮೂಲಗಳ ಪ್ರಕಾರ, ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಮತ್ತು ಉತ್ತರಾಖಂಡದ ಮುಖ್ಯಮಂತ್ರಿ ಪುಷ್ಕರ್ ಧಾಮಿ ಇಂದು ದಮಾತಾಗೆ ಧಾವಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243