ಬಹಿರಂಗ
ಇದು ನನ್ನ ಭಾರತ, ಅವರ ಅಪ್ಪನದ್ದಲ್ಲ..!
- ದಿನೇಶ್ ಅಮಿನ್ ಮಟ್ಟು
ಹದಿನೇಳು ವರ್ಷಗಳ ಹಿಂದೆ ದೇಶ-ವಿದೇಶದ ಪತ್ರಿಕೆ-ಚಾನೆಲ್ ಗಳಲ್ಲಿ ಗುಜರಾತ್ ಹಿಂಸಾಚಾರದ ಮುಖವೆಂಬಂತೆ ಒಂದು ಪೋಟೊ ಕಾಣಿಸಿಕೊಳ್ಳುತ್ತಲೇ ಇತ್ತು. ಅದು ಅಹ್ಮದಾಬಾದ್ ಸೋನೆ ಕೀ ಚಾಲ್ ನಲ್ಲಿ ಪೊಲೀಸರಿಗೆ ಕೈಮುಗಿದು ಬೇಡಿಕೊಳ್ಳುತ್ತಿದ್ದ ಕುತ್ಪುದ್ಧೀನ್ ಅನ್ಸಾರಿಯ ಚಿತ್ರ. ಇಡೀ ಗುಜರಾತ್ ನ ಮುಸ್ಲಿಮರ ಭೀತಿ,ಅಸಹಾಯಕತೆ, ಸಂಕಟ ಈ ಯುವಕನ ಮುಖದಲ್ಲಿ ಮುದುಡಿ ಕೂತಿತ್ತು.
ಅದೇ ಪತ್ರಿಕೆ-ಚಾನೆಲ್-ವೆಬ್ ಗಳಲ್ಲಿ ಜಾಮಿಯಾ ಮಿಲಿಯಾ ವಿಶ್ವವಿದ್ಯಾಲಯದ ಲದೀದಾ ಫರ್ಜಾನ ಮತ್ತು ಆಯೇಷಾ ರೆನ್ನಾ ಎಂಬ ಇಬ್ಬರು ಧೀರ ಮುಸ್ಲಿಮ್ ವಿದ್ಯಾರ್ಥಿನಿಯರು ( ಇವರಿಬ್ಬರೂ ಕೇರಳದ ವಿವಾಹಿತ ಹೆಣ್ಣು ಮಕ್ಕಳಂತೆ) ತಮ್ಮ ಸ್ನೇಹಿತೆಯರ ಜೊತೆ ಸೇರಿ ಇನ್ನೊಬ್ಬ ಸ್ನೇಹಿತನನ್ನು ಪೊಲೀಸರಿಂದ ರಕ್ಷಿಸಲು ಹೋರಾಡುತ್ತಿದ್ದ ಚಿತ್ರ ವೈರಲ್ ಆಗುತ್ತಿದೆ.
ಬೆಂಕಿ ಉಂಡೆಗಳಂತೆ ಉರಿಯುತ್ತಿದ್ದ ಆ ವಿದ್ಯಾರ್ಥಿನಿಯರ ಕೋಪದ ತಾಪಕ್ಕೆ ಪೊಲೀಸರೇ ಹಿಂದಡಿಯಿಟ್ಟು ಓಡಿದರು. ಅದನ್ನು ನೋಡಿದಾಗ ಊರಲ್ಲಿ ಗಿಡುಗ ದಾಳಿ ಇಟ್ಟಾಗ ತಾಯಿ ಕೋಳಿ ತನ್ನ ಪುಟ್ಟ ಮರಿಗಳನ್ನು ರಕ್ಷಿಸಲು ಕಾದಾಡುತ್ತಿರುವ ದೃಶ್ಯ ನನಗೆ ನೆನಪಾಯಿತು.
ಇದು ಬದಲಾಗುತ್ತಿರುವ ಭಾರತ, ಬದಲಾಗುತ್ತಿರುವ ಮುಸ್ಲಿಮರು. ಇದು ಕತ್ತಲೆಯ ಸುರಂಗದ ಕೊನೆಯಲ್ಲಿ ನಾವು ಕಾಣಬಯಸುವ ಬೆಳಕು. ದೆಹಲಿ ಗಲಭೆಯ ಚಿತ್ರಗಳನ್ನು ಟಿವಿಯಲ್ಲಿ ನೋಡುತ್ತಿರುವಾಗಲೆಲ್ಲ ನನ್ನನ್ನು ರೋಮಾಂಚನ ಗೊಳಿಸಿದ್ದು ಅಲ್ಲಿನ ಮುಸ್ಲಿಮ್ ವಿದ್ಯಾರ್ಥಿನಿಯರ ಧೈರ್ಯ, ಆಕ್ರೋಶ,ಆವೇಶಗಳು. ಬಹಳ ದಿನಗಳಿಂದ ನನ್ನೂರಿನ ಅನುಭವದ ಹಿನ್ನೆಲೆಯಲ್ಲಿ ನಾನು ಮುಸ್ಲಿಮ್ ಸಮಾಜದೊಳಗೆ ನಡೆಯುತ್ತಿರುವ ಈ ಬೆಳವಣಿಗೆಗಳನ್ನು ಗಮನಿಸುತ್ತಿದ್ದೇನೆ.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಮುಸ್ಲಿಮ್ ಕುಟುಂಬಗಳಲ್ಲಿ ಗಂಡುಮಕ್ಕಳಿಗಿಂತ ಹೆಚ್ಚಾಗಿ ಹೆಣ್ಣುಮಕ್ಕಳು ಓದುಬರಹ ಮಾತ್ರ ಕಲಿಯುವುದಲ್ಲ, ಎಂಜನಿಯರಿಂಗ್, ಮೆಡಿಕಲ್ ಶಿಕ್ಷಣ ಪಡೆಯುತ್ತಿದ್ದಾರೆ. ಹಲವು ಮುಸ್ಲಿಮ್ ಸ್ನೇಹಿತರ ಕುಟುಂಬಗಳ ಉದಾಹರಣೆಯನ್ನು ನಾನು ಕೊಡಬಲ್ಲೆ. ನಾವು ಗಮನಿಸಬೇಕಾಗಿರುವುದು ತಂದೆ-ತಾಯಿಯ ಬೆಂಬಲ ಇಲ್ಲದೆ ಯಾವ ಧರ್ಮದ ಕುಟುಂಬದಲ್ಲಿಯೂ ಹೆಣ್ಣುಮಕ್ಕಳು ಶಿಕ್ಷಣ ಪಡೆಯಲು ಸಾಧ್ಯ ಇಲ್ಲ ಎನ್ನುವುದನ್ನು.
ಎಲ್ಲ ಧರ್ಮಗಳ ಹೆಣ್ಣು ಮಕ್ಕಳು ಎರಡು ಬಗೆಯ ಯುದ್ಧಗಳನ್ನು ಗೆಲ್ಲಬೇಕಾಗಿದೆ, ಒಂದು ಮನೆಯೊಳಗೆ,ಇನ್ನೊಂದು ಹೊರಗೆ. ಮುಸ್ಲಿಮ್ ಹೆಣ್ಣು ಮಕ್ಕಳು ನಿಧಾನವಾಗಿ ಮನೆಯೊಳಗಿನ ಯುದ್ಧವನ್ನು ಗೆಲ್ಲುತ್ತಿದ್ದಾರೆ. ಮುಸ್ಲಿಮ್ ಹೆಣ್ಣು ಮಕ್ಕಳು ಶಿಕ್ಷಣ ಪಡೆಯುತ್ತಿದ್ದಾರೆಂದರೆ,ಅವರ ತಂದೆ-ತಾಯಿಗಳು ಕೂಡಾ ಹೆಣ್ಣುಮಕ್ಕಳ ಬಗೆಗಿನ ಅಭಿಪ್ರಾಯವನ್ನು ಬದಲಾಯಿಸಿಕೊಂಡಿದ್ದಾರೆ, ಅಷ್ಟರ ಮಟ್ಟಿನ ಜಾಗೃತಿ ಆಗಿದೆ ಎಂದು ಅರ್ಥವಲ್ಲವೇ?
ಪ್ರತಿಭಟನೆ ನಡೆಸುತ್ತಿದ್ದ ಮುಸ್ಲಿಮ್ ವಿದ್ಯಾರ್ಥಿನಿಯೊಬ್ಬಳು ‘’ ಇದು ನನ್ನ ಭಾರತ, ಅವರ ಅಪ್ಪನದ್ದಲ್ಲ, ನಾವು ಇಲ್ಲಿಯವರಲ್ಲ ಎಂದು ಹೇಳಲು ಆ ಮೋದಿ-ಶಹಾ ಯಾರು? ಎಂದು ಕಿರುಚಾಡುತ್ತಿದ್ದಳು. ಅಬ್ಬಬ್ಬಾ… ಒಂದು ಕ್ಷಣ ಆ ಹುಡುಗಿ ನನ್ನ ಮಗಳಾಗಬಾರದಿತ್ತೇ ಎಂದು ಅನಿಸಿತ್ತು ನನಗೆ.
ಭಾರತಕ್ಕೆ ಭವಿಷ್ಯ ಇಲ್ಲ ಎಂದು ಹೇಳಿದವರು ಯಾರು? ಈಗಿನ ಕತ್ತಲು ಸರಿದುಹೋಗಲಿದೆ, ಬೆಳಕನ್ನು ತಡೆಯಲಾಗದು.
(ದಿನೇಶ್ ಅಮಿನ್ ಮಟ್ಟು ಫೇಸ್‌ಬುಕ್ ಗೋಡೆಯಿಂದ ಈ ಲೇಖನ ತೆಗೆದುಕೊಳ್ಳಲಾಗಿದೆ.)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಪೂರ್ಣಚಂದ್ರ ತೇಜಸ್ವಿ ಕಾದಂಬರಿ ಪ್ರಶಸ್ತಿಗೆ ಹಸ್ತಪ್ರತಿ ಆಹ್ವಾನ
ಸುದ್ದಿದಿನ,ದಾವಣಗೆರೆ: ಕನ್ನಡ ಸಾಹಿತ್ಯದಲ್ಲಿ ಹೊಸ ಪ್ರತಿಭೆಗಳನ್ನು ಗುರುತಿಸಿ, ಪ್ರೋತ್ಸಾಹಿಸುವ ಉದ್ದೇಶದಿಂದ ದೇವನಗರಿ ಸುದ್ದಿದಿನ ಕನ್ನಡ ದಿನಪತ್ರಿಕೆ, ಏಕಾಂತಗಿರಿ ಟ್ರಸ್ಟ್, ದಾವಣಗೆರೆ ಹಾಗೂ ಶ್ಯಾಮ್ ಪ್ರಕಾಶನ, ನವಿಲೇಹಾಳು ವತಿಯಿಂದ ‘ಪೂರ್ಣಚಂದ್ರ ತೇಜಸ್ವಿ ಕಾದಂಬರಿ ಪ್ರಶಸ್ತಿ–2026’ ಘೋಷಿಸಲಾಗಿದ್ದು, ಅರ್ಹ ಬರಹಗಾರರಿಂದ ಕಾದಂಬರಿ ಹಸ್ತಪ್ರತಿಗಳನ್ನು ಆಹ್ವಾನಿಸಲಾಗಿದೆ.
ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಹೊಸ ಚಿಂತನೆ, ಸೃಜನಶೀಲತೆ ಹಾಗೂ ವಿಭಿನ್ನ ಕಥನ ಸಾಧ್ಯತೆಗಳನ್ನು ಹೊಂದಿರುವ ಕಾದಂಬರಿಕಾರರನ್ನು ಪರಿಚಯಿಸುವ ಆಶಯದೊಂದಿಗೆ ಈ ಪ್ರಶಸ್ತಿಯನ್ನು ಸ್ಥಾಪಿಸಲಾಗಿದೆ. ಇದುವರೆಗೆ ಯಾವುದೇ ಕಾದಂಬರಿಯನ್ನು ಪುಸ್ತಕ ರೂಪದಲ್ಲಿ ಪ್ರಕಟಿಸದ ಬರಹಗಾರರಿಗೆ ತಮ್ಮ ಸೃಜನಶೀಲತೆಯನ್ನು ಸಾಹಿತ್ಯ ಲೋಕಕ್ಕೆ ಪರಿಚಯಿಸಲು ಇದು ಉತ್ತಮ ವೇದಿಕೆಯಾಗಲಿದೆ. ಸಾಹಿತ್ಯದ ಇತರ ಪ್ರಕಾರಗಳಲ್ಲಿ ಕೃತಿಗಳನ್ನು ಪ್ರಕಟಿಸಿರುವ ಬರಹಗಾರರೂ ಈ ಸ್ಪರ್ಧೆಯಲ್ಲಿ ಭಾಗವಹಿಸಬಹುದಾಗಿದೆ.
ಸ್ಪರ್ಧೆಗೆ ಸಲ್ಲಿಸುವ ಕಾದಂಬರಿಯು ಸಂಪೂರ್ಣ ಸ್ವತಂತ್ರ ಹಾಗೂ ಲೇಖಕರ ಸ್ವಂತ ರಚನೆಯಾಗಿರಬೇಕು. ಕಾದಂಬರಿಯ ಯಾವುದೇ ಭಾಗವು ಈ ಮೊದಲು ಯಾವುದೇ ಮಾಧ್ಯಮಗಳಲ್ಲಿ ಪ್ರಕಟವಾಗಿರಬಾರದು ಅಥವಾ ಪ್ರಸಾರವಾಗಿರಬಾರದು. ಈಗಾಗಲೇ ಪುಸ್ತಕ ರೂಪದಲ್ಲಿ ಪ್ರಕಟವಾಗಿರುವ ಕಾದಂಬರಿಗಳನ್ನು ಪರಿಗಣಿಸಲಾಗುವುದಿಲ್ಲ. ವಯಸ್ಸಿನ ಯಾವುದೇ ಮಿತಿ ಇರುವುದಿಲ್ಲ.
ಹಸ್ತಪ್ರತಿಯನ್ನು A4 ಅಳತೆಯ ಹಾಳೆಯಲ್ಲಿ ನುಡಿ ಅಥವಾ ಯುನಿಕೋಡ್ ಕನ್ನಡ ಫಾಂಟ್ ಬಳಸಿ, 12 ಪಾಯಿಂಟ್ ಅಕ್ಷರ ಗಾತ್ರದಲ್ಲಿ ಸ್ಪಷ್ಟವಾಗಿ ಟೈಪ್ ಮಾಡಿರಬೇಕು. ಕಾದಂಬರಿಯು ಕನಿಷ್ಠ 120 ಪುಟಗಳಿಗಿಂತ ಕಡಿಮೆ ಇರಬಾರದು. ಹಸ್ತಪ್ರತಿಯ ಮೊದಲ ಪುಟದಲ್ಲಿ ಕಾದಂಬರಿಯ ಶೀರ್ಷಿಕೆಯನ್ನು ಮಾತ್ರ ನಮೂದಿಸಬೇಕು. ಲೇಖಕರ ಹೆಸರು, ಪೂರ್ಣ ವಿಳಾಸ, ಮೊಬೈಲ್ ಸಂಖ್ಯೆ, ಇ-ಮೇಲ್ ವಿಳಾಸ ಹಾಗೂ ಕಾದಂಬರಿಯ ಸಂಕ್ಷಿಪ್ತ ಪರಿಚಯವನ್ನು ಪ್ರತ್ಯೇಕ ಲಕೋಟೆಯಲ್ಲಿ ಕಳುಹಿಸಬೇಕು. ಕೃತಿಯು ಸ್ವತಂತ್ರ ರಚನೆಯಾಗಿದ್ದು, ಈ ಮೊದಲು ಪ್ರಕಟವಾಗಿಲ್ಲ ಎಂಬ ಸ್ವಯಂ ದೃಢೀಕರಣ ಪತ್ರವನ್ನೂ ಲಗತ್ತಿಸುವುದು ಕಡ್ಡಾಯವಾಗಿದೆ.
ಕೃತಿಗಳ ಆಯ್ಕೆಯಲ್ಲಿ ಸಾಹಿತ್ಯಕ ಗುಣಮಟ್ಟ, ಭಾಷಾ ಸೊಗಸು, ಕಥನ ತಂತ್ರ, ಸೃಜನಶೀಲತೆ, ವೈಚಾರಿಕತೆ ಹಾಗೂ ಸಾಮಾಜಿಕ ಪ್ರಸ್ತುತತೆಗೆ ಆದ್ಯತೆ ನೀಡಲಾಗುವುದು. ಆಯ್ಕೆ ಸಮಿತಿಯ ತೀರ್ಮಾನವೇ ಅಂತಿಮವಾಗಿದ್ದು, ಸಲ್ಲಿಸಿದ ಹಸ್ತಪ್ರತಿಗಳನ್ನು ಹಿಂದಿರುಗಿಸಲಾಗುವುದಿಲ್ಲ.
ಆಯ್ಕೆಯಾಗುವ ಕಾದಂಬರಿಗೆ ₹10,000 ನಗದು ಬಹುಮಾನ ನೀಡಿ ಗೌರವಿಸಲಾಗುವುದು. ಆಸಕ್ತರು ತಮ್ಮ ಹಸ್ತಪ್ರತಿಗಳನ್ನು ಡಿಸೆಂಬರ್ 30, 2026ರೊಳಗೆ ಕಳುಹಿಸಬೇಕು.
ಹಸ್ತಪ್ರತಿಗಳನ್ನು ‘ಸಂಪಾದಕರು, ದೇವನಗರಿ ಸುದ್ದಿದಿನ–ಕನ್ನಡ ದಿನಪತ್ರಿಕೆ, #3231/01, ಸಂಜೀವ ಸದನ, 11ನೇ ಮುಖ್ಯ ರಸ್ತೆ, 4ನೇ ಅಡ್ಡರಸ್ತೆ, ಎಂ.ಸಿ.ಸಿ. ಬಿ ಬ್ಲಾಕ್, ದಾವಣಗೆರೆ–577004’ ಈ ವಿಳಾಸಕ್ಕೆ ಕಳುಹಿಸಬಹುದು. ಹೆಚ್ಚಿನ ಮಾಹಿತಿಗಾಗಿ 9980346243 ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ಸುದ್ದಿದಿನ.ಕಾಂ | ವಾಟ್ಸಾಪ್ | 9980346243

ಅಂತರಂಗ
ದೇವನಗರಿ ಸುದ್ದಿದಿನ – ದೀಪಾವಳಿ ವಿಶೇಷ ಸಂಚಿಕೆ 2026 : ಕತಾ ಸ್ಪರ್ಧೆ ; ಅನಂತ ಕುಣಿಗಲ್ ಅವರ ಸಂಸ ಕತೆ ಪಡೆದ ಪ್ರಥಮ ಸ್ಥಾನ ಅಮಾನ್ಯ ; ಪರಿಷ್ಕೃತ ಫಲಿತಾಂಶ ಪ್ರಕಟ
ಸುದ್ದಿದಿನ,ದಾವಣಗೆರೆ:ದೇವನಗರಿ ಸುದ್ದಿದಿನ – ದೀಪಾವಳಿ ವಿಶೇಷ ಸಂಚಿಕೆ 2026ರ ಕತಾ ಸ್ಪರ್ಧೆಯ ನಿಯಮಾವಳಿಯನ್ನು ಉಲಂಘಿಸಿರುವ ಕಾರಣ ಅನಂತ ಕುಣಿಗಲ್ ಅವರ ಸಂಸ ಕತೆ ಪಡೆದ ಪ್ರಥಮ ಸ್ಥಾನವನ್ನು ಅಮಾನ್ಯ ಮಾಡಲಾಗಿದೆ ಎಂದು ಪತ್ರಿಕೆಯ ಸಂಪಾದಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕತೆ-ಕವಿತೆ ಸ್ಪರ್ಧೆಯ ನಿಯಮಾವಳಿಗಳ ಪ್ರಕಾರ ‘ “ಸ್ವತಂತ್ರ ರಚನೆಯಾಗಿರ ಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು” ಎನ್ನುವ ನಿಯಮಾವಳಿಗಳನ್ನು ಉಲಂಘಿಸಿರುವುದರಿಂದ ಪ್ರಥಮ ಸ್ಥಾನ ಪಡೆದ ” ಸಂಸ” ಕತೆಯನ್ನು ಅಮಾನ್ಯಗೊಳಿಸಲಾಗಿದೆ.
‘ಸಂಸ’ ಕತೆಯ ಕತೆಗಾರರಾದ ಅನಂತ ಕುಣಿಗಲ್ ಅವರು
ಸ್ವತಃ ತಮ್ಮ ಫೇಸ್ ಬುಕ್ ವಾಲ್ ನಲ್ಲಿ ‘ ಸಂಸ’ ಕತೆಯು ಈ ಹಿಂದೆ ಯಾವುದೋ ಕತಾ ಸ್ಪರ್ಧೆಯಲ್ಲಿ ಸಮಾಧಾನಕರ ಬಹುಮಾನ ಪಡೆದಿತ್ತು. ಮತ್ತೊಂದೆಡೆ ತೃತೀಯ, ಮಗದೊಂದೆಡೆ ದ್ವಿತೀಯ ಬಹುಮಾನ ಲಭಿಸಿತ್ತು, ಅಲ್ಲದೆ ‘ಟೋಟೋ’ ಅವಾರ್ಡ್ ನ ಅಂತಿಮ ಸುತ್ತಿಗೆ ಎರಡು ಬಾರಿ ಶಾರ್ಟ್ ಲಿಸ್ಟ್ ಆಗಿತ್ತು ಎಂದು ಬರೆದು ಕೊಂಡಿರುತ್ತಾರೆ. ಆದಕಾರಣ ಈ ಕ್ರಮವನ್ನು ಕೈಗೊಳ್ಳಲಾಗಿದೆ.
ಕತಾ ಸ್ಪರ್ಧೆಯ ಪರಿಷ್ಕೃತ ಫಲಿತಾಂಶ
ಕತಾ ಸ್ಪರ್ಧೆಯಲ್ಲಿ ರವಿಮುಡೋಡಿ ಅವರ ʼಅರ್ಧ ರೇಖೆಯ ಚಿತ್ರʼ ಕತೆಗೆ ಪ್ರಥಮ ಬಹುಮಾನ, ವಿಜಯ ಶ್ರೀ ಹಾಲಾಡಿ ಅವರ ʼಮಳೆಹಾಡುʼ ಕತೆಗೆ ದ್ವಿತೀಯ ಬಹುಮಾನ ಹಾಗೂ ಅಜೇಯ ಸಿಂಹ ಕೆ.ವಿ ಅವರ ‘ ಮಾರ್ಜಕದ ಶ್ರೀಮುಡಿ’ ಕತೆಗೆ ತೃತೀಯ ಬಹುಮಾನ ದೊರೆತಿದೆ ಎಂದು ಸುದ್ದಿದಿನ ಪತ್ರಿಕೆ ಸಂಪಾದಕ ಮಾಹಿತಿ ನೀಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
Mysuru Dasara Elephants: ದಸರಾ ಗಜಪಡೆಯ ತೂಕ ಪರೀಕ್ಷೆ: ಶ್ರೀಕಂಠ ಭಾರೀ ಗಜ, ಏಕಲವ್ಯಕ್ಕೆ 2ನೇ ಸ್ಥಾನ; ಅಂಬಾರಿ ಆನೆ ಆಯ್ಕೆ ಇನ್ನೂ ಬಾಕಿ
ಸುದ್ದಿದಿನ,ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಮೊದಲ ಹಂತದಲ್ಲಿ ಆಗಮಿಸಿರುವ 9 ಆನೆಗಳಿಗೆ ಸಾಂಪ್ರದಾಯಿಕ ತೂಕ ಪರೀಕ್ಷೆ ನಡೆಸಲಾಗಿದೆ. ಈ ಬಾರಿ ಮತ್ತಿಗೋಡು ಶಿಬಿರದ 57 ವರ್ಷದ ಶ್ರೀಕಂಠ 5,790 ಕೆಜಿ ತೂಕದೊಂದಿಗೆ ಗಜಪಡೆಯಲ್ಲೇ ಅತ್ಯಂತ ಭಾರವಾದ ಆನೆಯಾಗಿ ಮೊದಲ ಸ್ಥಾನ ಪಡೆದುಕೊಂಡಿದ್ದಾನೆ. ಭೀಮನಕಟ್ಟೆ ಶಿಬಿರದ 41 ವರ್ಷದ ಏಕಲವ್ಯ 5,600 ಕೆಜಿ ತೂಗಿ ಎರಡನೇ ಸ್ಥಾನದಲ್ಲಿದ್ದಾನೆ.
ನಗರದ ಧನ್ವಂತರಿ ರಸ್ತೆಯಲ್ಲಿರುವ ಎಲೆಕ್ಟ್ರಾನಿಕ್ ವೇ ಬ್ರಿಡ್ಜ್‌ನಲ್ಲಿ ಭಾನುವಾರ ಬೆಳಗ್ಗೆ ಎಲ್ಲ 9 ಆನೆಗಳ ತೂಕ ಪರೀಕ್ಷೆ ನಡೆಸಲಾಯಿತು. ಕಳೆದ ವರ್ಷ ಭೀಮ ಮತ್ತು ಅಭಿಮನ್ಯು ಕ್ರಮವಾಗಿ ಮೊದಲ ಎರಡು ಸ್ಥಾನದಲ್ಲಿದ್ದರು. ಆದರೆ ಈ ಬಾರಿ ಇವರಿಬ್ಬರನ್ನೂ ದಸರಾಗೆ ಕರೆತಂದಿಲ್ಲ. ಹೀಗಾಗಿ ಶ್ರೀಕಂಠನ ತೂಕವೇ ಈ ವರ್ಷದ ಗಜಪಡೆಯ ಗಮನ ಸೆಳೆದಿದೆ.
ಹೈಲೈಟ್ಸ್: 57 ವರ್ಷದ ಶ್ರೀಕಂಠನೇ ಗಜಪಡೆಯ ತೂಕದ ಬಾದ್‌ಷಾ |
|
http://Visit : www.suddidina.com
ಗಂಡಾನೆಗಳ ತೂಕ 5 ಸಾವಿರ ಕೆಜಿಗೂ ಅಧಿಕ
ಈ ಬಾರಿಯ ಮೊದಲ ಹಂತದ ಗಜಪಡೆಯ ವಿಶೇಷತೆಯೆಂದರೆ ಬಹುತೇಕ ಗಂಡಾನೆಗಳು 5 ಸಾವಿರ ಕೆಜಿಗೂ ಹೆಚ್ಚು ತೂಕ ಹೊಂದಿರುವುದು. ಆದರೆ ಆನೆಗಳ ತೂಕ ಹೆಚ್ಚಿಸುವುದೇ ಅರಣ್ಯ ಇಲಾಖೆಯ ಮುಖ್ಯ ಗುರಿಯಲ್ಲ. ಬದಲಿಗೆ ಅವುಗಳ ಆರೋಗ್ಯ, ದೈಹಿಕ ಸಾಮರ್ಥ್ಯ ಮತ್ತು ತಾಲೀಮಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ.
ಡಿಸಿಎಫ್ ಡಾ. ಐ.ಬಿ. ಪ್ರಭುಗೌಡ ಅವರ ಪ್ರಕಾರ, ಆನೆಗಳ ತೂಕದ ಆಧಾರದ ಮೇಲೆ ಅವುಗಳಿಗೆ ನೀಡಬೇಕಾದ ಆಹಾರದ ಪ್ರಮಾಣ ಮತ್ತು ಪೌಷ್ಟಿಕ ಆಹಾರವನ್ನು ನಿರ್ಧರಿಸಲಾಗುತ್ತದೆ. ಪ್ರತಿಯೊಂದು ಆನೆಯ ದೈಹಿಕ ಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ತಾಲೀಮು ರೂಪಿಸಲಾಗುತ್ತದೆ.
9 ಆನೆಗಳ ತೂಕದ ಆಧಾರದಲ್ಲೇ ಆಹಾರ
ದಸರಾ ಗಜಪಡೆಯಲ್ಲಿರುವ ಆನೆಗಳ ಆರೋಗ್ಯ ಕಾಪಾಡುವುದು ಪ್ರಮುಖ ಆದ್ಯತೆಯಾಗಿದೆ. ತೂಕ ಪರೀಕ್ಷೆಯ ಮೂಲಕ ಆನೆಗಳ ದೈಹಿಕ ಸ್ಥಿತಿಯ ಬಗ್ಗೆ ಅಗತ್ಯ ಮಾಹಿತಿ ಪಡೆಯಲಾಗುತ್ತದೆ. ಅದರ ಆಧಾರದ ಮೇಲೆ ಪೌಷ್ಟಿಕ ಆಹಾರ, ದಿನನಿತ್ಯದ ಚಟುವಟಿಕೆ ಹಾಗೂ ತಾಲೀಮಿನಲ್ಲಿ ಅಗತ್ಯ ಬದಲಾವಣೆ ಮಾಡಲಾಗುತ್ತದೆ.
ಅರಣ್ಯ ಇಲಾಖೆ ಅಧಿಕಾರಿಗಳ ಪ್ರಕಾರ, ಈಗಿರುವ ಎಲ್ಲ ಆನೆಗಳೂ ಅಂಬಾರಿ ಹೊರುವ ಸಾಮರ್ಥ್ಯ ಹೊಂದಿವೆ. ಅನುಭವಿ ಆನೆಗಳಾಗಿರುವುದರಿಂದ ಅಂತಿಮ ತಾಲೀಮು ಅತ್ಯಂತ ಮಹತ್ವ ಪಡೆಯಲಿದೆ.
ಅಂಬಾರಿ ಆನೆ ಯಾರು? ಕುತೂಹಲ
ಈ ಬಾರಿಯ ದಸರಾ ಜಂಬೂಸವಾರಿಯಲ್ಲಿ ಚಿನ್ನದ ಅಂಬಾರಿ ಹೊರುವ ಆನೆ ಯಾರು ಎಂಬ ಕುತೂಹಲ ಈಗಾಗಲೇ ಹೆಚ್ಚಾಗಿದೆ. ಕೇವಲ ತೂಕದ ಆಧಾರದ ಮೇಲೆ ಅಂಬಾರಿ ಆನೆಯನ್ನು ಆಯ್ಕೆ ಮಾಡುವುದಿಲ್ಲ. ಆನೆಯ ಆರೋಗ್ಯ, ಸಾಮರ್ಥ್ಯ, ಅನುಭವ, ತಾಲೀಮು ಮತ್ತು ಅಂತಿಮ ಹಂತದ ಪ್ರದರ್ಶನವನ್ನು ಪರಿಗಣಿಸಿ ಆಯ್ಕೆ ಮಾಡಲಾಗುತ್ತದೆ.
ಮೊದಲ ಹಂತದ ತಾಲೀಮು ಮುಗಿದ ಬಳಿಕ ನಡೆಯುವ ಅಂತಿಮ ತಾಲೀಮಿನ ನಂತರವೇ ಚಿನ್ನದ ಅಂಬಾರಿ ಹೊರುವ ಆನೆಯನ್ನು ಅಂತಿಮಗೊಳಿಸಲಾಗುತ್ತದೆ. ಹೀಗಾಗಿ ಶ್ರೀಕಂಠ ತೂಕದಲ್ಲಿ ನಂಬರ್ 1 ಆಗಿದ್ದರೂ, ಅಂಬಾರಿ ವಿಚಾರದಲ್ಲಿ ಅಂತಿಮ ನಿರ್ಧಾರ ಇನ್ನೂ ಬಾಕಿಯಿದೆ.
ಆನೆಗಳ ಬಳಿ ಸಾರ್ವಜನಿಕರಿಗೆ ನಿರ್ಬಂಧ
ದಸರಾ ಆನೆಗಳ ವೀಕ್ಷಣೆಗೆ ಯಾವುದೇ ಟಿಕೆಟ್ ವ್ಯವಸ್ಥೆ ಮಾಡಿಲ್ಲ ಎಂದು ಡಿಸಿಎಫ್ ಸ್ಪಷ್ಟಪಡಿಸಿದ್ದಾರೆ. ಸಾರ್ವಜನಿಕರು ಆನೆಗಳ ಬಳಿ ತೆರಳದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ದಸರಾ ಆನೆಗಳ ಕುರಿತು ಸುಳ್ಳು ಮಾಹಿತಿ ಹರಡಿದರೆ ಕ್ರಮ ಕೈಗೊಳ್ಳುವುದಾಗಿಯೂ ಅರಣ್ಯ ಇಲಾಖೆ ಎಚ್ಚರಿಕೆ ನೀಡಿದೆ.
“ಆನೆಗಳಿಗೆ ಹಂತ ಹಂತವಾಗಿ ತಾಲೀಮು ಮಾಡಲಾಗುತ್ತದೆ. ಸದ್ಯಕ್ಕೆ ಎಲ್ಲ ಆನೆಗಳ ಆರೋಗ್ಯ ಚೆನ್ನಾಗಿದೆ. ಅಂತಿಮ ಹಂತದ ತಾಲೀಮಿನ ಬಳಿಕ ಅಂಬಾರಿ ಹೊರುವ ಆನೆ ಆಯ್ಕೆ ಮಾಡಲಾಗುವುದು.”
– ಡಾ.ಐ.ಬಿ.ಪ್ರಭುಗೌಡ, ಡಿಸಿಎಫ್
ದಸರಾ ಗಜಪಡೆಯ ತೂಕದ ವಿವರ
- ಶ್ರೀಕಂಠ: 5,790 ಕೆಜಿ
- ಏಕಲವ್ಯ: 5,600 ಕೆಜಿ
- ಧನಂಜಯ: 5,530 ಕೆಜಿ
- ಮಹೇಂದ್ರ: 5,490 ಕೆಜಿ
- ಪ್ರಶಾಂತ: 5,205 ಕೆಜಿ
- ಗೋಪಿ: 5,170 ಕೆಜಿ
- ಶ್ರೀರಾಮ: 4,820 ಕೆಜಿ
- ಲಕ್ಷ್ಮೀ: 3,990 ಕೆಜಿ
- ಕಾವೇರಿ: 3,075 ಕೆಜಿ




