Connect with us

ದಿನದ ಸುದ್ದಿ

ಕ್ಯಾನ್ಸರ್ ಖಾಯಿಲೆಯನ್ನು ಪ್ರಾಥಮಿಕ ಹಂತದಲ್ಲೇ ಗುರುತಿಸಿದರೆ ಗುಣಪಡಿಸಬಹುದು: ಡಾ.ಜಿ.ಡಿ.ರಾಘವನ್

Published

on

ಸುದ್ದಿದಿನ,ದಾವಣಗೆರೆ: ಕ್ಯಾನ್ಸರ್ ಖಾಯಿಲೆಯನ್ನು ಪ್ರಾಥಮಿಕ ಹಂತದಲ್ಲೇ ಗುರುತಿಸಿ ಚಿಕಿತ್ಸೆ ನೀಡಿದಾಗ ರೋಗಿಯನ್ನು ಗುಣಮುಖರನ್ನಾಗಿ ಮಾಡಬಹುದು ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಜಿ.ಡಿ.ರಾಘವನ್ ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಛೇರಿ, ದಾವಣಗೆರೆ ಇವರುಗಳ ಸಹಯೋಗದಲ್ಲಿ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ವಿಶ್ವ ಕ್ಯಾನ್ಸರ್ ಜಾಗೃತಿ ದಿನದ ಅಂಗವಾಗಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ಕ್ಯಾನ್ಸರ್ ಕುರಿತು ಜನರಲ್ಲಿ ಮಾಹಿತಿ ಮತ್ತು ಅರಿವಿನ ಕೊರತೆ ಇದೆ. ಕ್ಯಾನ್ಸರ್ ಕುರಿತು ಅರಿವು ಮೂಡಿಸುವ ಮೂಲಕ ಮತ್ತು ಪ್ರಾಥಮಿಕ ಹಂತದಲ್ಲೇ ಚಿಕಿತ್ಸೆ ನೀಡುವುದರಿಂದ ಕ್ಯಾನ್ಸರ್ ಗುಣಪಡಿಸಬಹುದು ಎಂದರು.

ಆಶಾ ಕಾರ್ಯಕರ್ತೆಯರು ಅಸಾಂಕ್ರಾಮಿಕ ರೋಗಗಳ ಕಾರ್ಯಕ್ರಮಗಳಲ್ಲಿ ತಮ್ಮ ವ್ಯಾಪ್ತಿಯಲ್ಲಿ ಬರುವಂತಹ ಸಮುದಾಯದಲ್ಲಿ ಪ್ರತಿ ಮನೆಗೂ ಭೇಟಿ ನೀಡಿ 30 ವರ್ಷ ಮೇಲ್ಪಟ್ಟವರನ್ನು ಗುರುತಿಸಿ ಸಮುದಾಯ ಆಧಾರಿತ ತಾಳೆ ಪಟ್ಟಿಯನ್ನು ತುಂಬಿ ಅದರಲ್ಲಿ 4 ಕ್ಕಿಂತ ಹೆಚ್ಚು ಅಂಕಗಳನ್ನು ಹೊಂದಿರುವವರನ್ನು ಕಡ್ಡಾಯವಾಗಿ ಹತ್ತಿರದ ಪ್ರಾದೇಶಿಕ ಆರೋಗ್ಯ ಕೇಂದ್ರಕ್ಕೆ ಕರೆದು ತಪಾಸಣೆಗೆ ಒಳಪಡಿಸುವ ಮೂಲಕ ಕ್ಯಾನ್ಸರ್ ರೋಗವನ್ನು ತಡೆಗಟ್ಟಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಎಸ್.ಎಸ್.ಆಸ್ಪತ್ರೆಯ ಕ್ಯಾನ್ಸರ್ ರೋಗ ಶಸ್ತ್ರಚಿಕಿತ್ಸಕ ವಿಭಾಗದ ವೈದ್ಯಾಧಿಕಾರಿ ಡಾ. ಲಿಂಗನಗೌಡ ಪಾಟೀಲ್ ಮಾತನಾಡಿ, ಪ್ರಾಥಮಿಕ ಹಂತದಲ್ಲಿ ಲಕ್ಷಣಗಳನ್ನು ಕಂಡುಹಿಡಿಯುವ ಮೂಲಕ ಕ್ಯಾನ್ಸರ್ ರೋಗವನ್ನು ತಡೆಗಟ್ಟಬಹುದು.

ಐಸಿಎಂಆರ್-2020 ರ ಸಮೀಕ್ಷೆ ಪ್ರಕಾರ ನಮ್ಮ ದೇಶದಲ್ಲಿ ಅಂದಾಜು 13,92,179 ಕ್ಯಾನ್ಸರ್ ರೋಗಿಗಳಿದ್ದಾರೆ. ಪ್ರಮುಖವಾಗಿ ಗರ್ಭಕಂಠದ ಕ್ಯಾನ್ಸರ್ ಅತೀ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದು, ನಂತರ ಸ್ತನ ಕ್ಯಾನ್ಸರ್, ತದನಂತರ ಬಾಯಿ ಕ್ಯಾನ್ಸರ್ ರೋಗಿಗಳು ಕಂಡುಬರುತ್ತಿದ್ದಾರೆ ಎಂದು ಮಾಹಿತಿ ನೀಡಿದರು.

ಪ್ರಸ್ತುತ ದಿನಮಾನಗಳಲ್ಲಿ ವಿದ್ಯಾವಂತರಲ್ಲೇ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದು, ಪ್ರಾಥಮಿಕ ಹಂತದಲ್ಲಿ ಚಿಕಿತ್ಸೆ ಪಡೆಯಲು ಮಾನಸಿಕವಾಗಿ ಹಿಂಜರಿದು, ಕೊನೆಯ ಎರಡು ಹಂತದಲ್ಲಿ ಬಂದು ತಮ್ಮ ಅಳಲನ್ನು ತೋಡಿಕೊಳ್ಳುತ್ತಾರೆ. ಈ ಸಂದರ್ಭದಲ್ಲಿ ವೈದ್ಯರು ಎಷ್ಟೇ ಚಿಕಿತ್ಸೆ ನೀಡಿದರು ಸಹ 5 ರಿಂದ 7 ವರ್ಷದ ವರೆಗೆ ಮಾತ್ರ ಜೀವಿತಾ ಅವಧಿಯನ್ನು ಮುಂದೂಡಲು ಸಾಧ್ಯವಾಗುತ್ತಿದೆಯೇ ಹೊರತು ಪೂರ್ಣ ಪ್ರಮಾಣದಲ್ಲಿ ವಾಸಿಮಾಡಲು ಸಾಧ್ಯವಾಗುವುದಿಲ್ಲ. ಆದ್ದರಿಂದ ಸಾರ್ವಜನಿಕರಲ್ಲಿ ಕ್ಯಾನ್ಸರ್ ಕುರಿತು ಜಾಗೃತಿ ಮೂಡಿಸುವಂತಹ ಕೆಲಸಗಳು ಅತೀ ಹೆಚ್ಚಾಗಿ ಆಗಬೇಕು ಎಂದರು.

ಈ ವೇಳೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ನಾಗರಾಜ ಅಧ್ಯಕ್ಷೀಯ ಮಾತುಗಳನ್ನಾಡಿ, ಪ್ರಾದೇಶಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು ಗ್ರಾಮಗಳ ಜನರಿಗೆ ಕ್ಯಾನ್ಸರ್ ಕುರಿತು ಜಾಗೃತಿ ಮೂಡಿಸಬೇಕು. ಯಾವುದೇ ವ್ಯಕ್ತಿಯಲ್ಲಿ ಕ್ಯಾನ್ಸರ್ ಸಂಬಂಧಿಸಿದ ಲಕ್ಷಣಗಳು ಕಂಡುಬಂದಲ್ಲಿ ತಕ್ಷಣವೇ ಮೊದಲ ಹಂತದಲ್ಲಿ ಚಿಕಿತ್ಸೆ ನೀಡಬೇಕು ಎಂದು ಮನವಿ ಮಾಡಿದರು.

ಶರೀರದ ಯಾವುದೇ ಭಾಗದ ಜೀವಕೋಶಗಳ ಅನಿಯಂತ್ರಿತ ವಿಭಜನೆಯಾದರೆ ಅಥವಾ ರೋಗಿಯ ದೇಹದಲ್ಲಿ ವಿಪರಿತ ತೂಕ ಇಳಿಕೆ, ಹಸಿವು ಆಗದೆ ಇರುವುದು, ಬಾಯಲ್ಲಿ ಬಿಳಿ ಮಚ್ಚೆ ಅಥವಾ ಕೆಂಪು ಮಚ್ಚೆಗಳು ಹೆಚ್ಚಾಗಿ ಕಂಡುಬಂದಲ್ಲಿ, ಧ್ವನಿಯಲ್ಲಿ ಬದಲಾವಣೆ, ಬಾಯಿ ತೆರೆಯಲು ಆಗದೆ ಇರುವುದು, ಸ್ತನದ ಸುತ್ತ ನೋವು, ಊತ ಸ್ತನದ ತೊಟ್ಟಿನಿಂದ ರಕ್ತಸ್ರಾವ, ಮಹಿಳೆಯ ಮುಟ್ಟಿನ ನಂತರ ರಕ್ತಸ್ರಾವದ ವ್ಯತ್ಯಾಸ ಹೀಗೆ ಲಕ್ಷಣಗಳು ಕಂಡುಬಂದಲ್ಲಿ ಸಾರ್ವಜನಿಕರು ಮುಜುಗರಕ್ಕೆ ಒಳಗಾಗದೆ ತಕ್ಷಣವೇ ವೈದ್ಯರನ್ನು ಭೇಟಿ ಮಾಡಬೇಕು. ಹಾಗೆಯೇ ಈ ಲಕ್ಷಣಗಳನ್ನು ಒಳಗೊಂಡ ರೋಗಿಗಳನ್ನು ತಪಾಸಣೆಗೆ ಒಳಪಡಿಸಿ ಚಿಕಿತ್ಸೆ ನೀಡಬೇಕು ಎಂದರು.

ಈ ವೇಳೆ ಸ್ತ್ರೀರೋಗ ಮತ್ತು ಪ್ರಸೂತಿ ತಜ್ಞರಾದ ಡಾ. ಎಸ್.ಎ. ಗಿರಿಧರ್, ಸ್ತನ ಕ್ಯಾನ್ಸರ್, ಗರ್ಭ ಕಂಠದ ಕ್ಯಾನ್ಸರ್ ಮತ್ತು ಉಪಶಾಮಕ ಆರೈಕೆ ಬಗ್ಗೆ ಪಿಪಿಟಿ ಮೂಲಕ ಮಾಹಿತಿ ನೀಡಿದರು. ಕಾಲೇಜ್ ಆಫ್ ಡೆಂಟಲ್ ಸೈನ್ಸ್‍ನ ಹಿರಿಯ ಪ್ರಾಧ್ಯಾಪಕಿ ಡಾ. ಜಿ.ಪಿ.ಮಮತ ಬಾಯಿ ಕ್ಯಾನ್ಸರ್ ರೋಗದ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಆರ್‍ಸಿಹೆಚ್ ಅಧಿಕಾರಿ ಡಾ.ಮೀನಾಕ್ಷಿ, ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಕೆ.ಹೆಚ್.ಗಂಗಾಧರ್, ಜಿಲ್ಲಾ ಕುಷ್ಠರೋಗ ನಿವಾರಣಾಧಿಕಾರಿ ಡಾ.ಪಿ.ಡಿ. ಮುರುಳಿಧರ್, ಜಿಲ್ಲಾ ಮಲೇರಿಯ ನಿಯಂತ್ರಣ ಅಧಿಕಾರಿ ಡಾ.ನಟರಾಜ್, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ.ರೇಣುಕಾರಾಧ್ಯ ಸೇರಿದಂತೆ ಜಿಲ್ಲೆಯ ವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಡಾ.ಸುರೇಶ್ ಭಾರ್ಕಿ ನಿರೂಪಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಭಾನುವಾರವೂ ಕ್ಯಾಶ್ ಕೌಟರ್ ಓಪನ್ ; ವಿದ್ಯುತ್ ಬಿಲ್ ಬಾಕಿ ಪಾವತಿಸಿ : ಬೆಸ್ಕಾಂ

Published

on

ಸುದ್ದಿದಿನಡೆಸ್ಕ್:ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿರುವ ಗ್ರಾಹಕರು ವಿದ್ಯುತ್ ಸಂಪರ್ಕದ ಕಡಿತದಿಂದ ತೊಂದರೆಗೊಳಗಾಗದಂತೆ ನಾಳೆ ಮತ್ತು ಇದೇ 15ರ ಭಾನುವಾರವೂ ಬೆಸ್ಕಾಂ ಉಪ ವಿಭಾಗಗಳ ಕ್ಯಾಶ್ ಕೌಂಟರ್‌ಗಳು ತೆರೆದಿರಲಿವೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ಬಿಲ್ ಬಾಕಿ ಉಳಿಸಿಕೊಂಡಿರುವ ಗ್ರಾಹಕರು ವಿದ್ಯುತ್ ಸಂಪರ್ಕ ಕಡಿತದಿಂದ ತೊಂದರೆಗೆ ಒಳಗಾಗಬಾರದು ಹಾಗೂ ಆನ್‌ಲೈನ್ ಪೇಮೆಂಟ್ ಬಳಸದವರ ಅನಕೂಲಕ್ಕಾಗಿ ಈ ವಿಶೇಷ ವ್ಯವಸ್ಥೆ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಬಿಲ್ ಬಂದ 30 ದಿನದೊಳಗೆ ವಿದ್ಯುತ್ ಶುಲ್ಕ ಪಾವತಿಸದಿದ್ದಲ್ಲಿ ಮತ್ತು ಹೆಚ್ಚುವರಿ ಭದ್ರತಾ ಠೇವಣಿ ಮೊತ್ತ ಪಾವತಿಸದಿದ್ದಲ್ಲಿ ಕೆಇಆರ್‌ಸಿ ನಿಯಮಾವಳಿ ಅನ್ವಯ ಗ್ರಾಹಕರ ವಿದ್ಯುತ್ ಸಂಪರ್ಕ ಕಡಿತಗೊಳಿಸಲು ನಿರ್ಧರಿಸಿದ್ದು, ಸೆಪ್ಟೆಂಬರ್ 1ರಿಂದಲೇ ಈ ನಿಯಮ ಜಾರಿಯಾಗಿದೆ ಎಂದು ಹೇಳಿದೆ.

ವಿದ್ಯುತ್ ಬಿಲ್ ಬಾಕಿ ಮೊತ್ತ ಮತ್ತು ಹೆಚ್ಚುವರಿ ಭದ್ರತಾ ಠೇವಣಿ ಮೊತ್ತ 100 ರೂಪಾಯಿ ಗಳಿಗಿಂತ ಅಧಿಕವಾಗಿದ್ದಲ್ಲಿ, ಅಂತಹ ಸ್ಥಾಪನಗಳ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗುತ್ತದೆ. ಗೃಹ ಜ್ಯೋತಿಯೋಜನೆ ಅಡಿ ಶೂನ್ಯ ಬಿಲ್ ಪಡೆಯುತ್ತಿರುವ ಗ್ರಾಹಕರ ಹಿಂಬಾಕಿ ಶೂನ್ಯವಿದ್ದಲ್ಲಿ ಈ ಬಗ್ಗೆ ಚಿಂತಿಸಬೇಕಿಲ್ಲ ಎಂದು ಪ್ರಕಟಣೆ ಸ್ಪಷ್ಟಪಡಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಹತ್ತು ವರ್ಷಗಳ ಬಳಿಕ ಕಲಬುರಗಿಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಸಲು ಸರ್ಕಾರ ನಿರ್ಧಾರ

Published

on

ಸುದ್ದಿದಿನಡೆಸ್ಕ್:ಹತ್ತು ವರ್ಷಗಳ ಬಳಿಕ ಕಲಬುರಗಿ ಜಿಲ್ಲೆಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಸಲು ಸರ್ಕಾರ ನಿರ್ಧರಿಸಿದೆ.

ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿ ಕುರಿತಂತೆ ಚರ್ಚೆ ನಡೆಸಿ, ನಿರ್ಣಯ ತೆಗೆದುಕೊಳ್ಳಲು ಸೆಪ್ಟೆಂಬರ್ 17ಕ್ಕೆ ಸಂಪುಟ ಸಭೆ ನಡೆಯಲಿದೆ.

ಜಿಲ್ಲೆಯ ಮಿನಿ ವಿಧಾನಸೌಧದಲ್ಲಿರುವ ಪ್ರಾದೇಶಿಕ ಆಯುಕ್ತರ ಕಾರ್ಯಾಲಯದ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆಯುವ ಸಂಪುಟ ಸಭೆಯಲ್ಲಿ ಕಲ್ಯಾಣ ಕರ್ನಾಟಕದ ಬಗ್ಗೆ ವಿಶೇಷ ಆದ್ಯತೆ ನೀಡಲು ನಿರ್ಧರಿಸಲಾಗಿದೆ. ಈ ಹಿಂದೆ 2014ರ ನವೆಂಬರ್ 28ರಂದು ಸಿದ್ದರಾಮಯ್ಯ ನೇತೃತ್ವದಲ್ಲಿ ಕಲಬುರಗಿಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆದಿತ್ತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಇಂದು ದೇಶಾದ್ಯಂತ ಗಣೇಶ ಹಬ್ಬದ ಸಂಭ್ರಮ

Published

on

ಸುದ್ದಿದಿನಡೆಸ್ಕ್:ಇಂದು ಗಣೇಶ ಚತುರ್ಥಿ, ದೇಶ ಸೇರಿ ನಾಡಿನದ್ಯಂತ ಹಿಂದೂ ಸಂಪ್ರದಾಯದಲ್ಲಿ ನಾಡಿನ ಜನತೆ ತಮ್ಮ ಒಳಿತಿಗಾಗಿ, ಜ್ಞಾನ ಸಮೃದ್ಧಿಗಾಗಿ ಶಿವನ ಪುತ್ರ ಗಣೇಶನ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡಿ ಅತ್ಯಂತ ಶ್ರದ್ದಾ ಭಕ್ತಿಯಿಂದ ಈ ಹಬ್ಬವನ್ನು ಆಚರಣೆ ಮಾಡುತ್ತಿದ್ದಾರೆ ಅದರಂತೆ ಬೆಂಗಳೂರು ಜನತೆ ಮನೆ ಮನೆಗಳಲ್ಲಿ ಪ್ರತಿಷ್ಠಾಪನೆ ಮಾಡಿರುವ ಗಣೇಶನ ಮೂರ್ತಿಗಳನ್ನು ಜಲ ಮೂಲಗಳಲ್ಲಿ ವಿಸರ್ಜಿಸಲು ಬೆಂಗಳೂರು ಮಹಾ ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.

ಇನ್ನೂ ಗಣೇಶ ಚತುರ್ಥಿ ವಿಶೇಷವಾಗಿ ನಾಡಿನ ಜನತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸೇರಿದಂತ್ತೆ ಅನೇಕ ಸಚಿವರು ಹಾಗೂ ಗಣ್ಯರು ಶುಭ ಹಾರೈಸಿದ್ದಾರೆ.

ಗಣೇಶ ಹಬ್ಬದ ಆಚರಣೆಯ ಸಂದರ್ಭದಲ್ಲಿ ಮದ್ಯಪಾನಾಸಕ್ತರು ಗಲಭೆಮಾಡುವ ಸಾಧ್ಯತೆ ಇದ್ದು, ಈ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡುವ ದೃಷ್ಟಿಯಿಂದ ಕರ್ನಾಟಕ ಅಬಕಾರಿ ನಿಯಮಗಳಡಿ ಇಂದಿನಿಂದ ಉಡುಪಿ ಜಿಲ್ಲೆಯಾದ್ಯಂತ ಹಾಗೂ ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ಇದೇ 9 ಮತ್ತು ಸೆಪ್ಟೆಂಬರ್ 11 ರಂದು ಮಧ್ಯಾಹ್ನ 2 ರಿಂದ ಮದ್ಯರಾತ್ರಿ 12.00 ಗಂಟೆಯವರೆಗೆ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.

ನೈಸರ್ಗಿಕವಾಗಿ ತಯಾರಿಸಿದ ಮಣ್ಣಿನ ಗಣೇಶನ ವಿಗ್ರಹಗಳನ್ನು ಮಾತ್ರ ಬಳಸುವ ಮೂಲಕ ಕೆರೆ, ನದಿ ಮೂಲಗಳು ಕಲುಷಿತಗೊಳಿಸದಂತೆ ಕಾಪಾಡುವುದು ನಮ್ಮ ಕರ್ತವ್ಯ ಎಂದು ಸಣ್ಣ ನೀರಾವರಿ ಖಾತೆ ಸಚಿವ ಎನ್.ಎಸ್.ಬೋಸರಾಜು ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending