ದಿನದ ಸುದ್ದಿ
ದೇಶಾದ್ಯಂತ ಡಿ. 27 ರಂದು ಎಲ್ಲ ಆರೋಗ್ಯ ಕೇಂದ್ರಗಳಲ್ಲಿ ಮಾಕ್ ಡ್ರಿಲ್ ಆಯೋಜಿಸಲು ರಾಜ್ಯಗಳಿಗೆ ಕೇಂದ್ರ ಆರೋಗ್ಯ ಸಚಿವಾಲಯ ಪತ್ರ
ಸುದ್ದಿದಿನ ಡೆಸ್ಕ್ : ದೇಶಾದ್ಯಂತ ನಾಡಿದ್ದು ಮಂಗಳವಾರ ಎಲ್ಲ ಆರೋಗ್ಯ ಕೇಂದ್ರಗಳಲ್ಲಿ ಮಾಕ್ ಡ್ರಿಲ್ ನಡೆಸಬೇಕೆಂದು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಆರೋಗ್ಯ ಸಚಿವಾಲಯ ಪತ್ರ ಬರೆದಿದೆ.
ಕೇಂದ್ರ ಆರೋಗ್ಯ ಇಲಾಖೆ ಕಾರ್ಯದರ್ಶಿ ರಾಜೇಶ್ ಭೂಷಣ್, ಆಯಾ ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು, ಆರೋಗ್ಯ ಇಲಾಖೆ ಕಾರ್ಯದರ್ಶಿಗಳಿಗೆ ಪತ್ರದ ಮೂಲಕ ಈ ವಿಷಯ ತಿಳಿಸಿದ್ದಾರೆ.
ಮಾಕ್ ಡ್ರಿಲ್ ವೇಳೆ ಕೋವಿಡ್-19 ರ ನಿರ್ವಹಣೆಗೆ ಸಂಬಂಧಿಸಿದಂತೆ ಆರೋಗ್ಯ ಮೂಲ ಸೌಕರ್ಯವನ್ನು ಖಚಿತಪಡಿಸಿಕೊಳ್ಳುವಂತೆ ಸೂಚಿಸಲಾಗಿದೆ. ಆರೋಗ್ಯ ಸೌಲಭ್ಯಗಳು, ಆಸ್ಪತ್ರೆಗಳಲ್ಲಿ ಹಾಸಿಗೆಗಳ ಸಾಮರ್ಥ್ಯ, ವೈದ್ಯರು, ನರ್ಸ್‌ಗಳು ಮತ್ತು ಪ್ಯಾರಾಮೆಡಿಕಲ್ಸ್ ಲಭ್ಯತೆಯ ಬಗ್ಗೆ ಗಮನ ಹರಿಸಬೇಕಾಗಿದೆ ಎಂದು ಹೇಳಲಾಗಿದೆ.
ಅಲ್ಲದೆ, ಸಾಮಾನ್ಯ ವ್ಯವಸ್ಥೆಯಾದ ಆಂಬ್ಯುಲೆನ್ಸ್, ಪರೀಕ್ಷಾ ಸಾಮರ್ಥ್ಯ ಮತ್ತು ವೈದ್ಯಕೀಯ ಆಕ್ಸಿಜನ್ ಸೇರಿದಂಲ್ಸಿ ಇತರೆ ಆಧುನಿಕ ಸೌಲಭ್ಯಗಳ ಲಭ್ಯತೆಯನ್ನು ಖಚಿತಪಡಿಸಿಕೊಳ್ಳುವಂತೆ ಪತ್ರದಲ್ಲಿ ತಿಳಿಸಲಾಗಿದ್ದು, ಆಯಾ ಜಿಲ್ಲಾಧಿಕಾರಿಗಳ ನಿಗಾ ಮೇಲೆ ಮಾಕ್ ಡ್ರಿಲ್ ನಡೆಸಬೇಕು ಮತ್ತು ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಆರೋಗ್ಯ ಇಲಾಖೆ ಅಧಿಕಾರಿಗಳ ಜತೆ ನಿರಂತರ ಸಮನ್ವಯತೆ ಸಾಧಿಸಬೇಕೆಂದು ಸೂಚಿಸಲಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243