ದಿನದ ಸುದ್ದಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರ ಒಂದು ವರ್ಷ ಪೂರ್ಣ : ನೂತನ ಯೋಜನೆಗಳ ಘೋಷಣೆ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ ಡೆಸ್ಕ್ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದು ಒಂದು ವರ್ಷದ ಅಧಿಕಾರಾವಧಿ ಪೂರ್ಣಗೊಳಿಸಿದ ಸಂದರ್ಭದಲ್ಲಿ ನೂತನ ಯೋಜನೆಗಳನ್ನು ಘೋಷಣೆ ಮಾಡಿದರು.ವಿಧಾನಸೌಧದಲ್ಲಿ ಗುರುವಾರ ಸುದ್ದಿಗೋಷ್ಠಿ ನಡೆಸಿದ ಮುಖ್ಯಮಂತ್ರಿ, ಈವರೆಗೆ ಕೈಗೊಂಡ ಅಭಿವೃದ್ಧಿ ಯೋಜನೆಗಳು ಹಾಗೂ ಮುಂದೆ ಕೈಗೆತ್ತಿಕೊಳ್ಳಲು ಉದ್ದೇಶಿಸಿರುವ ಯೋಜನೆಗಳ ಕುರಿತು ಮಾಹಿತಿ ನೀಡಿದರು.

ಪರಿಶಿಷ್ಟ ಸಮುದಾಯದ ಯುವ ಸಬಲೀಕರಣ, ಶಿಕ್ಷಣ, ಆರೋಗ್ಯ ವಲಯದ ಮೂಲಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ ಎಂದು ಹೇಳಿದರು. ಪರಿಶಿಷ್ಟ ಸಮುದಾಯದ ಬಡ ಕುಟುಂಬಗಳಿಗೆ ಉಚಿತವಾಗಿ 75 ಯುನಿಟ್‌ವರೆಗೆ ಉಚಿತ ವಿದ್ಯುತ್ ನೀಡುವ ಯೋಜನೆಯಡಿ ಡಿಬಿಟಿ ವರ್ಗಾವಣೆ ಇಂದಿನಿಂದ ಆರಂಭವಾಗಲಿದೆ. ಸುಮಾರು 25ಲಕ್ಷ ಫಲಾನುಭವಿಗಳಿಗೆ ಅನುಕೂಲವಾಗಲಿದೆ. ಇದಕ್ಕಾಗಿ 700 ಕೋಟಿ ರೂಪಾಯಿ ಒದಗಿಸಲಾಗಿದೆ ಎಂದರು.

ಬಾಬು ಜಗಜೀವನ್ ರಾಂ ಅವರ ಹೆಸರಿನಲ್ಲಿ ಸ್ವಯಂ ಉದ್ಯೋಗ ಯೋಜನೆಯಡಿ ಪ್ರತಿಯೊಂದು ಕ್ಷೇತ್ರದಲ್ಲಿ 100 ಪರಿಶಿಷ್ಟ ಸಮುದಾಯದ ಯುವಕರಿಗೆ ಸ್ವಯಂ ಉದ್ಯೋಗ ನೀಡುವ ಯೋಜನೆಗೆ ಚಾಲನೆ ನೀಡಲಾಗಿದೆ ಎಂದು ಹೇಳಿದರು.

ಶಿಕ್ಷಣ ಹಾಗೂ ಅದರ ಮೂಲಸೌಕರ್ಯಗಳ ಅಭಿವೃದ್ಧಿಗೆ ಒತ್ತು ನೀಡಲಾಗಿದ್ದು, ‘ವಿವೇಕ’ ಯೋಜನೆಯಡಿ ಮೊದಲ ಬಾರಿಗೆ 8 ಸಾವಿರ ಶಾಲಾ ಕೊಠಡಿಗಳ ನಿರ್ಮಾಣ ಮಾಡಲಾಗುವುದು. ರಾಜ್ಯದ 100 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಮುದಾಯ ಆರೋಗ್ಯ ಕೇಂದ್ರಗಳಾಗಿ ಉನ್ನತೀಕರಣಗೊಳಿಸಲಾಗುವುದು. ಕಲ್ಯಾಣ ಕರ್ನಾಟಕ ಭಾಗದಲ್ಲಿ ಸುಮಾರು 71 ಪಿಎಚ್‌ಸಿಗಳನ್ನು ರಾಜ್ಯದ ಸರಾಸರಿಗಿಂತ ಕಡಿಮೆ ಸೂಚ್ಯಂಕ ಇರುವ ಪ್ರದೇಶಗಳಲ್ಲಿ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.

ಸ್ತ್ರೀಶಕ್ತಿ ಸಂಘಗಳಂತೆ ರಾಜ್ಯದ ಸುಮಾರು 28 ಸಾವಿರ ಗ್ರಾಮಗಳಲ್ಲಿ ತಲಾ ಒಂದು ವಿವೇಕಾನಂದ ಸ್ವಸಹಾಯ ಸಂಘಗಳನ್ನು ರಚಿಸಲಾಗುವುದು. ರೈತರ ಮಕ್ಕಳಿಗೆ ನೀಡುವಂತೆ ನೇಕಾರರು, ಟ್ಯಾಕ್ಸಿ ಚಾಲಕರು ಮತ್ತು ಮೀನುಗಾರರ ಮಕ್ಕಳಿಗೂ ವಿದ್ಯಾನಿಧಿ ಯೋಜನೆಯನ್ನು ವಿಸ್ತರಿಸಲಾಗಿದೆ ಎಂದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version