ದಿನದ ಸುದ್ದಿ
ನಾನು ಯಾವುದೇ ತನಿಖೆಗೆ ಹಿಂಜರಿಯುವುದಿಲ್ಲ : ಸಿಎಂ ಸಿದ್ದರಾಮಯ್ಯ
ಸುದ್ದಿದಿನಡೆಸ್ಕ್:ಹೈಕೋರ್ಟ್ ಆದೇಶದ ಅಂಶಗಳನ್ನು ಮಾಧ್ಯಮದ ಮೂಲಕ ತಿಳಿದುಕೊಂಡಿದ್ದೇನೆ. ಆದೇಶ ಪ್ರತಿ ಪಡೆದು ಓದಿದ ಬಳಿಕ ವಿಸ್ತೃತವಾದ ಪ್ರತಿಕ್ರಿಯೆ ನೀಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ನ್ಯಾಯಾಲಯವು ಸೆಕ್ಷನ್ 218 ರ ಅಡಿ ರಾಜ್ಯಪಾಲರು ನೀಡಿದ ಅಭಿಯೋಜನೆಯನ್ನು ನ್ಯಾಯಾಲಯ ಸಂಪೂರ್ಣವಾಗಿ ತಿರಸ್ಕರಿಸಿದೆ. ರಾಜ್ಯಪಾಲರ ಆದೇಶದಲ್ಲಿನ ಸೆಕ್ಷನ್ 17ಎ ಗೆ ಮಾತ್ರ ನ್ಯಾಯಮೂರ್ತಿಗಳು ಸೀಮಿತಗೊಳಿಸಿದ್ದಾರೆ.
ನಾನು ಯಾವುದೇ ತನಿಖೆಗೆ ಹಿಂಜರಿಯುವುದಿಲ್ಲ. ಕಾನೂನಿನ ಅಡಿ ಅಂತಹ ತನಿಖೆಗೆ ಅವಕಾಶ ಇದೆಯೋ ಇಲ್ಲವೋ ಎಂಬ ಬಗ್ಗೆ ತಜ್ಞರ ಜೊತೆ ಸಮಾಲೋಚಿಸುತ್ತೇನೆ. ಕಾನೂನು ತಜ್ಞರ ಜೊತೆ ಚರ್ಚಿಸಿ ಹೋರಾಟದ ರೂಪುರೇಷೆ ನಿರ್ಧರಿಸುತ್ತೇನೆ.
ದೂರುದಾರ ತನ್ನ ದೂರಿನಲ್ಲಿ ಸೆಕ್ಷನ್ 218 ಬಿಎನ್ಎಸ್ಎಸ್, 17 ಎ ಮತ್ತು 19 ಪಿಸಿ ಕಾಯಿದೆ ಪ್ರಕಾರ ತನಿಖೆ ಹಾಗೂ ಪ್ರಾಸಿಕ್ಯೂಷನ್ ಗೆ ಅನುಮತಿ ಕೇಳಿದ್ದರು. ಆದರೆ, ರಾಜ್ಯಪಾಲರು ಪ್ರಾಥಮಿಕ ಹಂತದಲ್ಲಿ 19 ಪಿಸಿ ಕಾಯಿದೆ ಪ್ರಕಾರ ಕೇಳಿದ್ದ ಅಭಿಯೋಜನಾ ಅನುಮತಿ ನಿರಾಕರಿಸಿದ್ದರು.
ಈ ದಿನ ಘನ ನ್ಯಾಯಾಲಯ ರಾಜ್ಯಪಾಲರು 218 ಬಿಎನ್ಎಸ್ಎಸ್ ಪ್ರಕಾರ ನೀಡಿರುವ ಅಭಿಯೋಜನಾ ಅನುಮತಿಯನ್ನು ಸ್ಪಷ್ಟವಾಗಿ ತಳ್ಳಿ ಹಾಕಿದೆ.
ಮುಂದಿನ ದಿನಗಳಲ್ಲಿ ಸತ್ಯ ಹೊರಬಂದು 17ಎ ಅಡಿ ನೀಡಿರುವ ತನಿಖೆ ರದ್ದಾಗಲಿದೆ ಎಂಬ ದೃಢ ವಿಶ್ವಾಸ ನನಗಿದೆ.
ಈ ರಾಜಕೀಯ ಹೋರಾಟದಲ್ಲಿ ರಾಜ್ಯದ ಜನ ನನ್ನ ಹಿಂದೆ ಇದ್ದಾರೆ. ಅವರ ಆಶೀರ್ವಾದವೇ ನನಗೆ ಶ್ರೀರಕ್ಷೆ.
ಕಾನೂನು ಮತ್ತು ಸಂವಿಧಾನದಲ್ಲಿ ನನಗೆ ನಂಬಿಕೆ ಇದೆ. ಈ ಹೋರಾಟದಲ್ಲಿ ಅಂತಿಮವಾಗಿ ಸತ್ಯಕ್ಕೆ ಜಯ ಸಿಗಲಿದೆ.
ಇದು ನರೇಂದ್ರ ಮೋದಿ ಅವರ ನೇತೃತ್ವದ ಬಿಜೆಪಿ ಸರ್ಕಾರದ ಸೇಡಿನ ರಾಜಕೀಯದ ವಿರುದ್ಧದ ಹೋರಾಟ. ಬಿಜೆಪಿ, ಜೆಡಿಎಸ್ ನ ಈ ಸೇಡಿನ ರಾಜಕೀಯದ ವಿರುದ್ಧ ನಮ್ಮ ನ್ಯಾಯಾಂಗದ ಹೋರಾಟ ಮುಂದುವರಿಯಲಿದೆ. ನ್ಯಾಯಾಲಯದ ಮೇಲೆ ನನಗೆ ನಂಬಿಕೆ ಇದೆ.
ನಮ್ಮ ಪಕ್ಷದ ಎಲ್ಲ ಶಾಸಕರು, ನಾಯಕರು ಮತ್ತು ಕಾರ್ಯಕರ್ತರು ಹಾಗೂ ಕಾಂಗ್ರೆಸ್ ಹೈಕಮಾಂಡ್ ನನ್ನ ಪರವಾಗಿ ಭದ್ರವಾಗಿ ನಿಂತಿದ್ದು, ಕಾನೂನಿನ ಹೋರಾಟ ಮುಂದುವರಿಸುವಂತೆ ಉತ್ತೇಜನ ನೀಡಿದ್ದಾರೆ.
ನಾನು ಬಡವರ ಪರವಾಗಿದ್ದೇನೆ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿದ್ದೇನೆ ಎನ್ನುವ ಕಾರಣಕ್ಕಾಗಿ ನನ್ನ ವಿರುದ್ದ ಬಿಜೆಪಿ, ಜೆಡಿಎಸ್ ರಾಜಕೀಯ ಪ್ರತಿಕಾರಕ್ಕೆ ಇಳಿದಿದೆ.
ನನ್ನ 40 ವರ್ಷಗಳ ರಾಜಕೀಯ ಜೀವನದುದ್ದಕ್ಕೂ ಇಂತಹ ಸೇಡು, ಸಂಚಿನ ರಾಜಕೀಯವನ್ನು ಎದುರಿಸಿದ್ದೇನೆ ಮತ್ತು ರಾಜ್ಯದ ಜನರ ಆಶೀರ್ವಾದ, ಹಾರೈಕೆಯ ಬಲದಿಂದ ಗೆಲ್ಲುತ್ತಾ ಬಂದಿದ್ದೇನೆ. ಈ ಹೋರಾಟವನ್ನು ಜನತೆಯ ಆಶೀರ್ವಾದದ ಬಲದಿಂದ ಗೆಲ್ಲುತ್ತೇನೆ ಎಂಬ ವಿಶ್ವಾಸ ಇದೆ.
ಮುಡಾ ಪ್ರಕರಣ ಒಂದು ನೆಪ ಅಷ್ಟೇ. ಬಡವರು ಮತ್ತು ಶೋಷಿತರ ಪರವಾಗಿರುವ ನಮ್ಮ ಸರ್ಕಾರದ ಯೋಜನೆಗಳನ್ನು ನಿಲ್ಲಿಸಬೇಕೆಂಬುದೇ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಮುಖ್ಯ ಉದ್ದೇಶ.
ಮುಡಾ ಪ್ರಕರಣವನ್ನು ಸೃಷ್ಟಿಸಿ, ಅದರ ಮೂಲಕ ಸುಳ್ಳು ಆರೋಪಗಳನ್ನು ಮಾಡುತ್ತಿರುವವರ ಮುಖಗಳನ್ನು ಒಮ್ಮೆ ರಾಜ್ಯದ ಜನತೆ ಸರಿಯಾಗಿ ನೋಡಬೇಕೆಂದು ಮನವಿ ಮಾಡುತ್ತೇನೆ.
ನನ್ನ ರಾಜೀನಾಮೆ ಕೇಳುತ್ತಿರುವ ಇದೇ ನಾಯಕರು ನಾನು ರಾಜ್ಯದ ಬಡವರು, ಶೋಷಿತರ ಪರವಾಗಿ ಜಾರಿಗೆ ತಂದಿದ್ದ ಯೋಜನೆಗಳನ್ನು ವಿರೋಧಿಸಿದವರೇ ಆಗಿದ್ದಾರೆ.
ಇದೇ ಬಿಜೆಪಿ, ಜೆಡಿಎಸ್ ನಾಯಕರು ನಾನು ಮೊದಲ ಬಾರಿ ಮುಖ್ಯಮಂತ್ರಿಯಾಗಿದ್ದಾಗ ಜಾರಿಗೆ ತಂದಿದ್ದ ಅನ್ನಭಾಗ್ಯ, ಕ್ಷೀರ ಭಾಗ್ಯ, ಕ್ಷೀರ ಧಾರೆ, ವಿದ್ಯಾಸಿರಿ, ಕೃಷಿಭಾಗ್ಯ, ಪಶುಭಾಗ್ಯ, ಇಂದಿರಾ ಕ್ಯಾಂಟೀನ್ ಯೋಜನೆಗಳನ್ನು ವಿರೋಧಿಸಿದ್ದಾರೆ.
ಇಂದು ನನ್ನ ವಿರುದ್ಧ ರಾಜಕೀಯ ಸಂಚು ನಡೆಸುತ್ತಿರುವ ಇದೇ ನಾಯಕರು ಎಸ್‌ಸಿಎಸ್‌ಪಿ/ಟಿಎಸ್‌ಪಿ ಕಾಯ್ದೆಯನ್ನು ವಿರೋಧಿಸಿದ್ದಾರೆ.
ಕರ್ನಾಟಕದ ಜನತೆ ಇಲ್ಲಿಯ ವರೆಗೆ ಭಾರತೀಯ ಜನತಾ ಪಕ್ಷಕ್ಕೆ ಸ್ವಂತ ಬಲದಿಂದ ಅಧಿಕಾರಕ್ಕೆ ಬರುವಷ್ಟು ಬಹುಮತ ನೀಡಿಲ್ಲ. ಇಲ್ಲಿಯ ವರೆಗೆ ಬಿಜೆಪಿ ಅನೈತಿಕವಾಗಿ, ದುಡ್ಡಿನ ಬಲದಿಂದ ಆಪರೇಷನ್ ಕಮಲ ನಡೆಸಿ ಅಧಿಕಾರಕ್ಕೆ ಬಂದದ್ದು.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಜನತೆ ಆಪರೇಷನ್ ಕಮಲಕ್ಕೆ ಅವಕಾಶವೇ ಇಲ್ಲದಂತೆ ನಮ್ಮ ಪಕ್ಷಕ್ಕೆ 136 ಸದಸ್ಯರ ಬಲ ನೀಡಿ ಗೆಲ್ಲಿಸಿದರು.
ಇದರಿಂದ ಹತಾಶೆಗೀಡಾಗಿರುವ ಬಿಜೆಪಿ, ಜೆಡಿಎಸ್ ನಾಯಕರು, ರಾಜಭವನವನ್ನು ದುರ್ಬಳಕೆ ಮಾಡಿಕೊಂಡು ನನ್ನ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುವ ಮೂಲಕ ನಮ್ಮ ಸರ್ಕಾರವನ್ನು ಅಸ್ಥಿರಗೊಳಿಸುವ ಹುನ್ನಾರ ನಡೆಸಿದ್ದಾರೆ.
ರಾಜಭವನದ ದುರ್ಬಳಕೆ ಮೂಲಕ ವಿರೋಧ ಪಕ್ಷಗಳ ಸರ್ಕಾರವನ್ನು ಹಣಿಯುವ ಸಂಚನ್ನು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದೇಶಾದ್ಯಂತ ನಡೆಸುತ್ತಿದೆ.
ನನ್ನ ಪ್ರಕರಣದಲ್ಲಿಯೂ ಬಿಜೆಪಿ ಮತ್ತು ಜೆಡಿಎಸ್ ಇದೇ ರೀತಿ ಮುಖಭಂಗ ಅನುಭವಿಸುವುದು ಖಂಡಿತ.
ಸತ್ಯಮೇವ ಜಯತೇ ಎಂದಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | 18 ನೇ ವಾರ್ಡ್ ನಲ್ಲಿ ಕೈ ಅಭ್ಯರ್ಥಿ ಸಮರ್ಥ ಶಾಮನೂರು ಪ್ರಚಾರ
ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಸಮರ್ಥ್ ಶಾಮನೂರು ಅವರು ಮಂಗಳವಾರ 18 ನೇ ವಾರ್ಡ್ ವ್ಯಾಪ್ತಿಯಲ್ಲಿ ಅಬ್ಬರ ಪ್ರಚಾರ ನಡೆಸಿದರು.
ನಗರದ ಬಾರ್ ಲೈನ್ ದರ್ಗಕ್ಕೆ ತೆರಳಿ ಚಾದರ ಅರ್ಪಿಸಿದ ಸಮರ್ಥ ಶಾಮನೂರು ಅವರಿಗೆ ಮುಸ್ಲಿಂ ಸಮಾಜದ ಬಾಂಧವರು ಆತ್ಮೀಯವಾಗಿ ಸನ್ಮಾನಿಸಿದರು. ಬಳಿಕ ಅಲ್ಲಿಂದ ಪ್ರಚಾರವನ್ನು ಆರಂಭಿಸಿದ ಅವರು ಎಂ.ಬಿ ಕೇರಿ, ಮಟನ್ ಮಾರ್ಕೇಟ್, ಗಡಿಯಾರ ಕಂಬ, ಸ್ವಾಗೇರ್ ಪೇಟೆ, ಹೊಂಡದ ರಸ್ತೆ, ಕಾಯಿಪೇಟೆಯ ಮನೆ ಮನೆಗೆ ತೆರಳಿ ಮತಯಾಚಿಸಿದರು.
ಕಾಂಗ್ರೆಸ್ ಪಕ್ಷದ ಮುಖಂಡರಾದ ನರಸಿಂಹಪ್ಪ, ರವಿಕುಮಾರ್, ಕಾಶಿನಾಥ್ ಅವರ ಮನೆಗೆ ಅಭ್ಯರ್ಥಿ ಸಮರ್ಥ ಶಾಮನುರು ಅವರು ಭೇಟಿ ನೀಡಿದಾಕ್ಷಣ ಕುಟುಂಬಸ್ಥರು ದಿವಂಗತರಾದ ಡಾ.ಶಾಮನೂರು ಶಿವಶಂಕರಪ್ಪ ಅವರನ್ನು ನೆನೆದು ಭಾವುಕರಾದರು. ಶಾಮನೂರು ಸಮರ್ಥ ಅವರಿಗೆ ದಕ್ಷಿಣ ಕ್ಷೇತ್ರದಲ್ಲಿ ಪ್ರಚಂಡ ಬಹುಮತವನ್ನು ನೀಡಿ ಗೆಲ್ಲಿಸುತ್ತೇವೆ ಎಂದು ಮತದಾರರು ಅಭಿಪ್ರಾಯ ವ್ಯಕ್ತಪಡಿಸಿದರು.
ಸ್ಥಳೀಯ ಮುಖಂಡರಾದ ಚಂದ್ರ ಶೇಖರ್, ಸೋಗಿ ಶಾಂತಕುಮಾರ್, ಪ್ರವೀಣ್ ರಾವ್, ಬಕ್ಕೇಶ್, ಪರಮೇಶ್, ಜಯರಾಜ್, ಹನುಮಂತ್, ರಾಘವೇಂದ್ರ, ಭೀಮಣ್ಣ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಕರ್ನಾಟಕ ಜಾಹೀರಾತು ನೀತಿಗೆ ಸಂಪಾದಕರ ವಿರೋಧ ; ಸಿಎಂಗೆ ಮನವಿ
ನೀತಿಯನ್ನು ಪರಿಶೀಲಿಸುವ ಭರವಸೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಸುದ್ದಿದಿನ,ದಾವಣಗೆರೆ: ಕರ್ನಾಟಕ ಜಾಹೀರಾತು ನೀತಿ-2026 ರಲ್ಲಿ ಪತ್ರಿಕೆಗಳಿಗೆ ಮಾರಕವಾದ ನಿಯಮಗಳನ್ನು ಕೈಬಿಡುವಂತೆ ಕೋರಿ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ದಾವಣಗೆರೆ ಜಿಲ್ಲಾ ವರದಿಗಾರರ ಕೂಟದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸೋಮವಾರ ಮಧ್ಯಾಹ್ನ ನಗರದ ಎಂ.ಬಿ.ಎ ಗ್ರೌಂಡ್ ಹೆಲಿಪ್ಯಾಡ್ ನಲ್ಲಿ ಮನವಿ ಸಲ್ಲಿಸಲಾಯಿತು.
ರಾಜ್ಯದಲ್ಲಿ ಜಾರಿಗೆ ತರಲು ಹೊರಟಿರುವ ಕರ್ನಾಟಕ ಜಾಹೀರಾತು ನೀತಿ-2026 ಜಿಲ್ಲಾ ಮಟ್ಟದ ಮತ್ತು ಪ್ರಾದೇಶಿಕ ಮಟ್ಟದ ಪತ್ರಿಕೆಗಳಿಗೆ ಮಾರಕವಾಗಿದ್ದು,ಇದರಿಂದ ಶತಶತಮಾನಗಳಿಂದ ಸಮಾಜದ ಮತ್ತು ಸರ್ಕಾರದ ಕೊಂಡಿಯಾಗಿ ಸೇವೆ ಮಾಡುತ್ತಿರುವ ಪತ್ರಿಕೆಗಳು ಮುಚ್ಚುತ್ತವೆ. ಯಾವುದೇ ಕಾರಣಕ್ಕೂ ಪತ್ರಿಕೆಗಳಿಗೆ ಮಾರಕವಾಗುವ ನಿಯಮಗಳನ್ನು ಅಳವಡಿಸದೇ ಪತ್ರಿಕೆಗಳ ಏಳಿಗೆಗೆ ಪೂರಕವಾದ ಅಂಶಗಳನ್ನು ಸೇರಿಸಿ ಕರ್ನಾಟಕ ಜಾಹೀರಾತು ನೀತಿಯನ್ನು ಜಾರಿಗೆ ತರಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ , ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರಿಗೆ ಮನವರಿಕೆ ಮಾಡಿಕೊಡಲಾಯಿತು.
ಸಂಘಗಳ ಮನವಿ ಸ್ವೀಕರಿಸಿದ ಮುಖ್ಯಮಂತ್ರಿಗಳು ಜಾಹೀರಾತು ನೀತಿ ಪರಿಶೀಲಿಸುವ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘದ ರಾಜ್ಯಾಧ್ಯಕ್ಷರಾದ ಎ.ಸಿ.ತಿಪ್ಪೇಸ್ವಾಮಿ, ಜಿಲ್ಲಾ ಘಟಕದ ಅಧ್ಯಕ್ಷರಾದ ಸುರೇಶ್ ಆರ್ ಕುಣೆಬೆಳಕೆರೆ, ಖಜಾಂಜಿ ಶಿವಮೂರ್ತಿ ಟಿ.ಜಿ , ರಾಜ್ಯ ಸಂಘದ ನಾಮನಿರ್ದೇಶನ ಸದಸ್ಯ ಕೆ.ಜೈಮುನಿ ಮತ್ತು
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಅಧ್ಯಕರಾದ ಇ.ಎಂ.ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಬದ್ರಿನಾಥ್, ಖಜಾಂಚಿ ಜೆ.ಎಸ್.ವೀರೇಶ್ ಹಾಗೂ ದಾವಣಗೆರೆ ಜಿಲ್ಲಾ ವರದಿಗಾರರ ಕೂಟದ ಅಧ್ಯಕ್ಷರಾದ ನಾಗರಾಜ ಬಡದಾಳ್ , ಹಿರಿಯ ಪತ್ರಕರ್ತರಾದ ಕೆ.ಏಕಾಂತಮ್ಮ, ಬಿ.ಎನ್.ಮಲ್ಲೇಶ್, ಮಲ್ಲಿಕಾರ್ಜುನ ಕಬ್ಬೂರು, ಆರ್.ಎಸ್.ತಿಪ್ಪೇಸ್ವಾಮಿ, ಕೊಟ್ರೇಶ್ ಅಣಬೂರುಮಠ, ನಿಂಗಪ್ಪ, ಗೋವಿಂದ ರಾಜು, ಫಕೃದ್ದೀನ್, ಆರ್.ರವಿ,ಬಿ.ವಾಸುದೇವ, ರಾಘವೇಂದ್ರ ರಾವ್, ವೇದಮೂರ್ತಿ,ನಿಂಗಪ್ಪ, ಪರಶುರಾಮ, ನಂದಕುಮಾರ್ ಮುಂತಾದವರು ಇದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಹರಿಹರ ನಗರಸಭೆಯು 04 ಸಂಖ್ಯಾತಿರಿಕ್ತ ಪೌರಕಾರ್ಮಿಕರ ಹುದ್ದೆಗಳನ್ನು ವಿಶೇಷ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಪ್ರಸ್ತುತ ಹರಿಹರ ನಗರಸಭೆಯಲ್ಲಿ ಕೆಲಸ ನಿರ್ವಹಿಸುತ್ತಿರುವವರು ಹಾಗೂ ಈ ನಿಯಮ ಜಾರಿಗೆ ಬಂದ ದಿನಾಂಕದಲ್ಲಿಯೂ ಸದರಿ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಮಾರ್ಚ್ 11 ರಿಂದ ಅರ್ಜಿಗಳನ್ನು ಪಡೆದುಕೊಳ್ಳಬಹುದು.
ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಏಪ್ರಿಲ್ 10 ಕಡೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಅರ್ಜಿಗಳನ್ನು ಹರಿಹರ ನಗರಸಭೆ ಕಚೇರಿಯಿಂದ ಮಾತ್ರ ಪಡೆದುಕೊಳ್ಳಬೇಕು. ಹುದ್ದೆಗಳ ವರ್ಗೀಕರಣ, ಷರತ್ತುಗಳು, ವಯೋಮಿತಿ ಮತ್ತು ಅಗತ್ಯ ಅರ್ಹತೆಗಳ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಕಚೇರಿ ಸಮಯದಲ್ಲಿ ಹರಿಹರ ನಗರಸಭೆ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ದಾವಣಗೆರೆಯ ಜಿಲ್ಲಾಧಿಕಾರಿಗಳು ಹಾಗೂ ಆಯ್ಕೆ ಮತ್ತು ನೇರ ನೇಮಕಾತಿ ಪ್ರಾಧಿಕಾರದ ಅಧ್ಯಕ್ಷರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243


