ದಿನದ ಸುದ್ದಿ
ನಾನು ಯಾವುದೇ ತನಿಖೆಗೆ ಹಿಂಜರಿಯುವುದಿಲ್ಲ : ಸಿಎಂ ಸಿದ್ದರಾಮಯ್ಯ
ಸುದ್ದಿದಿನಡೆಸ್ಕ್:ಹೈಕೋರ್ಟ್ ಆದೇಶದ ಅಂಶಗಳನ್ನು ಮಾಧ್ಯಮದ ಮೂಲಕ ತಿಳಿದುಕೊಂಡಿದ್ದೇನೆ. ಆದೇಶ ಪ್ರತಿ ಪಡೆದು ಓದಿದ ಬಳಿಕ ವಿಸ್ತೃತವಾದ ಪ್ರತಿಕ್ರಿಯೆ ನೀಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ನ್ಯಾಯಾಲಯವು ಸೆಕ್ಷನ್ 218 ರ ಅಡಿ ರಾಜ್ಯಪಾಲರು ನೀಡಿದ ಅಭಿಯೋಜನೆಯನ್ನು ನ್ಯಾಯಾಲಯ ಸಂಪೂರ್ಣವಾಗಿ ತಿರಸ್ಕರಿಸಿದೆ. ರಾಜ್ಯಪಾಲರ ಆದೇಶದಲ್ಲಿನ ಸೆಕ್ಷನ್ 17ಎ ಗೆ ಮಾತ್ರ ನ್ಯಾಯಮೂರ್ತಿಗಳು ಸೀಮಿತಗೊಳಿಸಿದ್ದಾರೆ.
ನಾನು ಯಾವುದೇ ತನಿಖೆಗೆ ಹಿಂಜರಿಯುವುದಿಲ್ಲ. ಕಾನೂನಿನ ಅಡಿ ಅಂತಹ ತನಿಖೆಗೆ ಅವಕಾಶ ಇದೆಯೋ ಇಲ್ಲವೋ ಎಂಬ ಬಗ್ಗೆ ತಜ್ಞರ ಜೊತೆ ಸಮಾಲೋಚಿಸುತ್ತೇನೆ. ಕಾನೂನು ತಜ್ಞರ ಜೊತೆ ಚರ್ಚಿಸಿ ಹೋರಾಟದ ರೂಪುರೇಷೆ ನಿರ್ಧರಿಸುತ್ತೇನೆ.
ದೂರುದಾರ ತನ್ನ ದೂರಿನಲ್ಲಿ ಸೆಕ್ಷನ್ 218 ಬಿಎನ್ಎಸ್ಎಸ್, 17 ಎ ಮತ್ತು 19 ಪಿಸಿ ಕಾಯಿದೆ ಪ್ರಕಾರ ತನಿಖೆ ಹಾಗೂ ಪ್ರಾಸಿಕ್ಯೂಷನ್ ಗೆ ಅನುಮತಿ ಕೇಳಿದ್ದರು. ಆದರೆ, ರಾಜ್ಯಪಾಲರು ಪ್ರಾಥಮಿಕ ಹಂತದಲ್ಲಿ 19 ಪಿಸಿ ಕಾಯಿದೆ ಪ್ರಕಾರ ಕೇಳಿದ್ದ ಅಭಿಯೋಜನಾ ಅನುಮತಿ ನಿರಾಕರಿಸಿದ್ದರು.
ಈ ದಿನ ಘನ ನ್ಯಾಯಾಲಯ ರಾಜ್ಯಪಾಲರು 218 ಬಿಎನ್ಎಸ್ಎಸ್ ಪ್ರಕಾರ ನೀಡಿರುವ ಅಭಿಯೋಜನಾ ಅನುಮತಿಯನ್ನು ಸ್ಪಷ್ಟವಾಗಿ ತಳ್ಳಿ ಹಾಕಿದೆ.
ಮುಂದಿನ ದಿನಗಳಲ್ಲಿ ಸತ್ಯ ಹೊರಬಂದು 17ಎ ಅಡಿ ನೀಡಿರುವ ತನಿಖೆ ರದ್ದಾಗಲಿದೆ ಎಂಬ ದೃಢ ವಿಶ್ವಾಸ ನನಗಿದೆ.
ಈ ರಾಜಕೀಯ ಹೋರಾಟದಲ್ಲಿ ರಾಜ್ಯದ ಜನ ನನ್ನ ಹಿಂದೆ ಇದ್ದಾರೆ. ಅವರ ಆಶೀರ್ವಾದವೇ ನನಗೆ ಶ್ರೀರಕ್ಷೆ.
ಕಾನೂನು ಮತ್ತು ಸಂವಿಧಾನದಲ್ಲಿ ನನಗೆ ನಂಬಿಕೆ ಇದೆ. ಈ ಹೋರಾಟದಲ್ಲಿ ಅಂತಿಮವಾಗಿ ಸತ್ಯಕ್ಕೆ ಜಯ ಸಿಗಲಿದೆ.
ಇದು ನರೇಂದ್ರ ಮೋದಿ ಅವರ ನೇತೃತ್ವದ ಬಿಜೆಪಿ ಸರ್ಕಾರದ ಸೇಡಿನ ರಾಜಕೀಯದ ವಿರುದ್ಧದ ಹೋರಾಟ. ಬಿಜೆಪಿ, ಜೆಡಿಎಸ್ ನ ಈ ಸೇಡಿನ ರಾಜಕೀಯದ ವಿರುದ್ಧ ನಮ್ಮ ನ್ಯಾಯಾಂಗದ ಹೋರಾಟ ಮುಂದುವರಿಯಲಿದೆ. ನ್ಯಾಯಾಲಯದ ಮೇಲೆ ನನಗೆ ನಂಬಿಕೆ ಇದೆ.
ನಮ್ಮ ಪಕ್ಷದ ಎಲ್ಲ ಶಾಸಕರು, ನಾಯಕರು ಮತ್ತು ಕಾರ್ಯಕರ್ತರು ಹಾಗೂ ಕಾಂಗ್ರೆಸ್ ಹೈಕಮಾಂಡ್ ನನ್ನ ಪರವಾಗಿ ಭದ್ರವಾಗಿ ನಿಂತಿದ್ದು, ಕಾನೂನಿನ ಹೋರಾಟ ಮುಂದುವರಿಸುವಂತೆ ಉತ್ತೇಜನ ನೀಡಿದ್ದಾರೆ.
ನಾನು ಬಡವರ ಪರವಾಗಿದ್ದೇನೆ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿದ್ದೇನೆ ಎನ್ನುವ ಕಾರಣಕ್ಕಾಗಿ ನನ್ನ ವಿರುದ್ದ ಬಿಜೆಪಿ, ಜೆಡಿಎಸ್ ರಾಜಕೀಯ ಪ್ರತಿಕಾರಕ್ಕೆ ಇಳಿದಿದೆ.
ನನ್ನ 40 ವರ್ಷಗಳ ರಾಜಕೀಯ ಜೀವನದುದ್ದಕ್ಕೂ ಇಂತಹ ಸೇಡು, ಸಂಚಿನ ರಾಜಕೀಯವನ್ನು ಎದುರಿಸಿದ್ದೇನೆ ಮತ್ತು ರಾಜ್ಯದ ಜನರ ಆಶೀರ್ವಾದ, ಹಾರೈಕೆಯ ಬಲದಿಂದ ಗೆಲ್ಲುತ್ತಾ ಬಂದಿದ್ದೇನೆ. ಈ ಹೋರಾಟವನ್ನು ಜನತೆಯ ಆಶೀರ್ವಾದದ ಬಲದಿಂದ ಗೆಲ್ಲುತ್ತೇನೆ ಎಂಬ ವಿಶ್ವಾಸ ಇದೆ.
ಮುಡಾ ಪ್ರಕರಣ ಒಂದು ನೆಪ ಅಷ್ಟೇ. ಬಡವರು ಮತ್ತು ಶೋಷಿತರ ಪರವಾಗಿರುವ ನಮ್ಮ ಸರ್ಕಾರದ ಯೋಜನೆಗಳನ್ನು ನಿಲ್ಲಿಸಬೇಕೆಂಬುದೇ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಮುಖ್ಯ ಉದ್ದೇಶ.
ಮುಡಾ ಪ್ರಕರಣವನ್ನು ಸೃಷ್ಟಿಸಿ, ಅದರ ಮೂಲಕ ಸುಳ್ಳು ಆರೋಪಗಳನ್ನು ಮಾಡುತ್ತಿರುವವರ ಮುಖಗಳನ್ನು ಒಮ್ಮೆ ರಾಜ್ಯದ ಜನತೆ ಸರಿಯಾಗಿ ನೋಡಬೇಕೆಂದು ಮನವಿ ಮಾಡುತ್ತೇನೆ.
ನನ್ನ ರಾಜೀನಾಮೆ ಕೇಳುತ್ತಿರುವ ಇದೇ ನಾಯಕರು ನಾನು ರಾಜ್ಯದ ಬಡವರು, ಶೋಷಿತರ ಪರವಾಗಿ ಜಾರಿಗೆ ತಂದಿದ್ದ ಯೋಜನೆಗಳನ್ನು ವಿರೋಧಿಸಿದವರೇ ಆಗಿದ್ದಾರೆ.
ಇದೇ ಬಿಜೆಪಿ, ಜೆಡಿಎಸ್ ನಾಯಕರು ನಾನು ಮೊದಲ ಬಾರಿ ಮುಖ್ಯಮಂತ್ರಿಯಾಗಿದ್ದಾಗ ಜಾರಿಗೆ ತಂದಿದ್ದ ಅನ್ನಭಾಗ್ಯ, ಕ್ಷೀರ ಭಾಗ್ಯ, ಕ್ಷೀರ ಧಾರೆ, ವಿದ್ಯಾಸಿರಿ, ಕೃಷಿಭಾಗ್ಯ, ಪಶುಭಾಗ್ಯ, ಇಂದಿರಾ ಕ್ಯಾಂಟೀನ್ ಯೋಜನೆಗಳನ್ನು ವಿರೋಧಿಸಿದ್ದಾರೆ.
ಇಂದು ನನ್ನ ವಿರುದ್ಧ ರಾಜಕೀಯ ಸಂಚು ನಡೆಸುತ್ತಿರುವ ಇದೇ ನಾಯಕರು ಎಸ್‌ಸಿಎಸ್‌ಪಿ/ಟಿಎಸ್‌ಪಿ ಕಾಯ್ದೆಯನ್ನು ವಿರೋಧಿಸಿದ್ದಾರೆ.
ಕರ್ನಾಟಕದ ಜನತೆ ಇಲ್ಲಿಯ ವರೆಗೆ ಭಾರತೀಯ ಜನತಾ ಪಕ್ಷಕ್ಕೆ ಸ್ವಂತ ಬಲದಿಂದ ಅಧಿಕಾರಕ್ಕೆ ಬರುವಷ್ಟು ಬಹುಮತ ನೀಡಿಲ್ಲ. ಇಲ್ಲಿಯ ವರೆಗೆ ಬಿಜೆಪಿ ಅನೈತಿಕವಾಗಿ, ದುಡ್ಡಿನ ಬಲದಿಂದ ಆಪರೇಷನ್ ಕಮಲ ನಡೆಸಿ ಅಧಿಕಾರಕ್ಕೆ ಬಂದದ್ದು.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಜನತೆ ಆಪರೇಷನ್ ಕಮಲಕ್ಕೆ ಅವಕಾಶವೇ ಇಲ್ಲದಂತೆ ನಮ್ಮ ಪಕ್ಷಕ್ಕೆ 136 ಸದಸ್ಯರ ಬಲ ನೀಡಿ ಗೆಲ್ಲಿಸಿದರು.
ಇದರಿಂದ ಹತಾಶೆಗೀಡಾಗಿರುವ ಬಿಜೆಪಿ, ಜೆಡಿಎಸ್ ನಾಯಕರು, ರಾಜಭವನವನ್ನು ದುರ್ಬಳಕೆ ಮಾಡಿಕೊಂಡು ನನ್ನ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುವ ಮೂಲಕ ನಮ್ಮ ಸರ್ಕಾರವನ್ನು ಅಸ್ಥಿರಗೊಳಿಸುವ ಹುನ್ನಾರ ನಡೆಸಿದ್ದಾರೆ.
ರಾಜಭವನದ ದುರ್ಬಳಕೆ ಮೂಲಕ ವಿರೋಧ ಪಕ್ಷಗಳ ಸರ್ಕಾರವನ್ನು ಹಣಿಯುವ ಸಂಚನ್ನು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದೇಶಾದ್ಯಂತ ನಡೆಸುತ್ತಿದೆ.
ನನ್ನ ಪ್ರಕರಣದಲ್ಲಿಯೂ ಬಿಜೆಪಿ ಮತ್ತು ಜೆಡಿಎಸ್ ಇದೇ ರೀತಿ ಮುಖಭಂಗ ಅನುಭವಿಸುವುದು ಖಂಡಿತ.
ಸತ್ಯಮೇವ ಜಯತೇ ಎಂದಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ದಾವಣಗೆರೆ | ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟು ಯೋಜನೆಯಲ್ಲಿ ಶೇ.100 ರಷ್ಟು ಪ್ರಗತಿ ಸಾಧಿಸಲು ಸೂಚನೆ ; ಅಪರ ಜಿಲ್ಲಾಧಿಕಾರಿ ಪಿ.ಎನ್.ಲೊಕೇಶ್
ಸುದ್ದಿದಿನ,ದಾವಣಗೆರೆ:ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟು ಯೋಜನೆಯಲ್ಲಿ ಶೇ.100 ರಷ್ಟು ಪ್ರಗತಿ ಸಾಧಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಪಿ.ಎನ್.ಲೊಕೇಶ್ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅವರು (ಅ.3) ರಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಆಯೋಜಿಸಲಾಗಿದ್ದ. ಪರಿಶಿಷ್ಟ. ಜಾತಿ ಹಾಗೂ ಬುಡಕಟ್ಟು ಉಪಯೋಜನೆಯಡಿ ಅನುಷ್ಠಾನಗೊಳಿಸುತ್ತಿರುವ ಕಾರ್ಯಕ್ರಮಗಳ ಪರಿಶೀಲನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟು ಯೋಜನೆಯಲ್ಲಿ ಬರುವ ವಿವಿಧ ಇಲಾಖೆಗಳು ಯಾವುದೇ ಫಲಾನುಭವಿ ಆಯ್ಕೆಯಲ್ಲಿ ಹಾಗೂ ಟೆಂಡರ್ ಪ್ರಕ್ರಿಯೆಯಲ್ಲಿ ವಿಳಂಬ ಮಾಡದೆ ಕಾರ್ಯನಿರ್ವಹಿಸಬೇಕು ತಿಳಿಸಿದರು.
ಪ್ರಸಕ್ತ ಸಾಲಿನ ವಿವಿಧ ಇಲಾಖೆಗಳು ವಿಶೇಷ ಘಟಕ ಯೋಜನೆ ಮತ್ತು ಬುಡಕಟ್ಟು ಉಪ ಯೋಜನೆಯಡಿಯಲ್ಲಿ ಎಸ್.ಸಿ.ಎಸ್.ಪಿ ಶೇ. 83.44 ಹಾಗೂ ಟಿ.ಎಸ್.ಪಿ ಶೇ.82.96 ರಷ್ಟು ಆಗಿದ್ದು. ಇದನ್ನು ಇನ್ನು ಹೆಚ್ಚಿನ ಮಟ್ಟದಲ್ಲಿ ಅನುಷ್ಠಾನ ಆಗಬೇಕು ಎಂದು ತಿಳಿಸಿದರು.
ಎಸ್.ಸಿ.ಪಿ.ಯಡಿ 240.88 ಕೋಟಿ ಹಂಚಿಕೆಯಾಗಿ 89.98 ಕೋಟಿ ಬಿಡುಗಡೆ ಮಾಡಲಾಗಿದೆ, ಇದರಲ್ಲಿ 74.56 ವೆಚ್ಚ ಮಾಡಲಾಗಿದೆ. ಟಿಎಸ್‍ಪಿಯಡಿ 108.10 ಕೋಟಿ ಹಂಚಿಕೆಯಾಗಿದ್ದು 53.68 ಕೋಟಿ ಬಿಡುಗಡೆಯಾಗಿದ್ದು 44.10 ಕೋಟಿ ವೆಚ್ಚ ಮಾಡಲಾಗಿದೆ. ಈ ವರ್ಷದ ಅಂತ್ಯಕ್ಕೆ ಶೇ 100 ರಷ್ಟು ಸಾಧನೆಯನ್ನು ಎಲ್ಲಾ ಇಲಾಖೆಗಳು ಮಾಡಲು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಮಲ್ಲನಯ್ಕ್, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಕರಾದ ನಾಗರಾಜ್ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಬಾಪೂಜಿ ಪ್ರಬಂಧ ಸ್ಪರ್ಧೆ ; ಸಚಿವರಿಂದ ವಿಜೇತರಿಗೆ ನಗದು ಬಹುಮಾನ ವಿತರಣೆ
ಸುದ್ದಿದಿನ,ತುಮಕೂರು: ಮಹಾತ್ಮ ಗಾಂಧೀಜಿ ಜಯಂತಿ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯೋಜಿಸಿದ್ದ ಜಿಲ್ಲಾ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ಅವರು ನಗದು ಬಹುಮಾನ ಹಾಗೂ ಪ್ರಮಾಣಪತ್ರ ವಿತರಣೆ ಮಾಡಿದರು.
ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ನಿನ್ನೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಮಹಾನಗರ ಪಾಲಿಕೆ ವತಿಯಿಂದ ಆಯೋಜಿಸಿದ್ದ ಮಹಾತ್ಮ ಗಾಂಧೀಜಿ, ಲಾಲ್ ಬಹದ್ದೂರ್ ಶಾಸ್ತಿç ಜಯಂತಿ ಹಾಗೂ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿದ ನಂತರ ಬಹುಮಾನ ವಿತರಣೆ ಮಾಡಿದರು.
ಪ್ರೌಢ ಶಾಲಾ ವಿಭಾಗದಲ್ಲಿ ಹನುಮನಹಳ್ಳಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ದೀಕ್ಷಿತ ಪ್ರಥಮ, ಅಮೃತೂರು ಕೆ.ಪಿ.ಎಸ್ ವಿದ್ಯಾರ್ಥಿ ಎನ್.ಎನ್. ಹಿಮಾನಿ ದ್ವಿತೀಯ, ಅಂಕಸಂದ್ರ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿ ಎ. ಪಿ. ಅಶ್ವಿನಿ ತೃತೀಯ ಸ್ಥಾನ; ಪದವಿ ಪೂರ್ವ ಕಾಲೇಜು ವಿಭಾಗದಿಂದ ಸಿರಾ ಪ್ರೆಸಿಡೆನ್ಸಿ ಪದವಿ ಪೂರ್ವ ಕಾಲೇಜಿನ ಎಸ್.ಎಂ. ಗುಣಶ್ರೀ ಪ್ರಥಮ, ತುರುವೇಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಹೆಚ್.ಎನ್. ಇಂಚರ ದ್ವೀತಿಯ, ತುಮಕೂರು ದಿ ಮಾಸ್ಟರ್ಸ್ ಪದವಿ ಪೂರ್ವ ಕಾಲೇಜಿನ ಆರ್. ವೆಂಕಟ್ ತೇಜ್ ತೃತೀಯ ಸ್ಥಾನ; ಪದವಿ ವಿಭಾಗದಿಂದ ತುಮಕೂರು ವಿಶ್ವವಿದ್ಯಾಲಯದ ಎಂ. ಎ ಪ್ರಥಮ ವರ್ಷದ ಶರಣಪ್ಪ ಪ್ರಥಮ, ಎಸ್. ಕೆ. ಸುಪ್ರೀತ ದ್ವಿತೀಯ, ಹೆಚ್.ಡಿ. ಸಂತೋಷ್ ತೃತೀಯ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಸಚಿವರು ನಗದು ಬಹುಮಾನ, ಪ್ರಮಾಣಪತ್ರ ವಿತರಣೆ ಮಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು, ಮಹಾನಗರ ಪಾಲಿಕೆ ಆಯುಕ್ತೆ ಬಿ.ವಿ.ಅಶ್ವಿಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್ , ವಾರ್ತಾ ಇಲಾಖೆಯ ಅಧಿಕಾರಿ ಹಿಮಂತರಾಜು.ಜಿ, ಸೇರಿದಂತೆ ಪೌರ ಕಾರ್ಮಿಕರು, ವಿದ್ಯಾರ್ಥಿಗಳು ಮತ್ತಿತರರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ತುಮಕೂರು-ಚಿತ್ರದುರ್ಗ-ದಾವಣಗೆರೆ ನೇರ ರೈಲು ಮಾರ್ಗ ಇದೇ ಆರ್ಥಿಕ ವರ್ಷದಲ್ಲಿ ಕಾಮಗಾರಿ ಪ್ರಾರಂಭ ; 2027 ಕ್ಕೆ ಜನವರಿಯೊಳಗೆ ರೈಲು ಸಂಚಾರಕ್ಕೆ ಕ್ರಮ : ಸಚಿವರಾದ ವಿ.ಸೋಮಣ್ಣ
ಸುದ್ದಿದಿನ,ದಾವಣಗೆರೆ: ತುಮಕೂರು-ಚಿತ್ರದುರ್ಗ-ದಾವಣಗೆರೆ ನೇರ ರೈಲು ಮಾರ್ಗದ ಭೂ ಸ್ವಾಧೀನ ಪ್ರಕ್ರಿಯೆ ಮುಗಿಯುವ ಹಂತದಲ್ಲಿದ್ದು ಮುಂದಿನ ನಾಲ್ಕೈದು ತಿಂಗಳು ಇದೇ ಆರ್ಥಿಕ ವರ್ಷಾಂತ್ಯದಲ್ಲಿ ಹಲವು ಕಡೆ ಕಾಮಗಾರಿ ಪ್ರಾರಂಭಿಸಲಾಗುತ್ತದೆ ಎಂದು ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಸಚಿವರಾದ ವಿ.ಸೋಮಣ್ಣ ತಿಳಿಸಿದರು.
ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಮತ್ತು ರೈಲ್ವೆ ಇಲಾಖೆ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ ಪರಿಶೀಲನಾ ಸಭೆ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ನೇರ ರೈಲು ಮಾರ್ಗವು ನಿಧಾನಗತಿಯಲ್ಲಿ ಸಾಗುತ್ತಿದ್ದು ಕಳೆದ ಎರಡೂವರೆಗೆ ತಿಂಗಳಿಂದ ಇದರ ಪ್ರಗತಿ ವೇಗ ಹೆಚ್ಚಿಸಲಾಗಿದೆ. ಒಟ್ಟು ಈ ಯೋಜನೆಗೆ 2406.73 ಎಕರೆ ಭೂಮಿ ಬೇಕಾಗಿದ್ದು ಈಗಾಗಲೇ 2119.16 ಎಕರೆ ಭೂಮಿ ಸ್ವಾಧೀನಪಡಿಸಿಕೊಳ್ಳಲಾಗಿದೆ. 287.54 ಎಕರೆ ಸ್ವಾಧೀನ ಮಾಡಿಕೊಳ್ಳಬೇಕಾಗಿದ್ದು ದಾವಣಗೆರೆ ಜಿಲ್ಲೆಯಲ್ಲಿ ಹಾದುಹೋಗುವ 263.78 ಎಕರೆ ಜಮೀನಿನಲ್ಲಿ 246.20 ಎಕರೆ ಸ್ವಾಧೀನ ಪಡಿಸಿಕೊಂಡಿದ್ದು 17.58 ಎಕರೆಯ ಸ್ವಾಧೀನ ಪ್ರಕ್ರಿಯೆ ವಿವಿಧ ಹಂತದಲ್ಲಿದ್ದು ಕೆಲವೇ ದಿನಗಳಲ್ಲಿ ಪೂರ್ಣವಾಗಲಿದೆ ಎಂದರು.
ತುಮಕೂರು-ಚಿತ್ರದುರ್ಗ-ದಾವಣಗೆರೆ ನೇರ ರೈಲು ಯೋಜನೆಯನ್ನು ಕಾಲಮಿತಿಯಲ್ಲಿ ಮುಕ್ತಾಯಗೊಳಿಸುವ ಗುರಿ ಹೊಂದಲಾಗಿದ್ದು 2027 ರ ಜನವರಿಯೊಳಗಾಗಿ ಪೂರ್ಣಗೊಳಿಸಿ ಉದ್ಘಾಟನೆ ಮಾಡಲು ಉದ್ದೇಶಿಸಲಾಗಿದೆ. ರೈಲ್ವೆ ಕಾಮಗಾರಿಯನ್ನು ಸಂಪೂರ್ಣವಾಗಿ ಕೇಂದ್ರ ಸರ್ಕಾರದಿಂದ ಅಭಿವೃದ್ದಿ ಮಾಡಲಾಗುತ್ತದೆ. ಇದೇ ಆರ್ಥಿಕ ವರ್ಷದ ಕೊನೆಯಾಗುವ ವೇಳೆಗೆ ಕನಿಷ್ಠ 4 ರಿಂದ 5 ಕಡೆ ಕಾಮಗಾರಿ ಪ್ರಾರಂಭಿಸಲಾಗುತ್ತದೆ ಎಂದರು.
ರಾಜ್ಯದಲ್ಲಿ ಒಟ್ಟು 21 ರೈಲ್ವೆ ಯೋಜನೆಗಳು ನಡೆಯುತ್ತಿದ್ದು ಇದಕ್ಕಾಗಿ 43 ಸಾವಿರ ಕೋಟಿ ವೆಚ್ಚ ಮಾಡಲಾಗುತ್ತದೆ. ಈ ಎಲ್ಲಾ ಯೋಜನೆಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಿ ರಾಜ್ಯವನ್ನು ರೈಲ್ವೆ ಸೌಕರ್ಯ ಹೊಂದಿದ ರಾಜ್ಯವನ್ನಾಗಿ ಮಾಡುವ ಗುರಿ ಹೊಂದಲಾಗಿದೆ.
ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ಹೊಸ ರೈಲ್ವೆ ಯೋಜನೆಗೆ ಈಗಾಗಲೇ ದಾವಣಗೆರೆ ಜಿಲ್ಲಾ ವ್ಯಾಪ್ತಿಯಲ್ಲಿ 115.11.08 ಎಕರೆ ಜಮೀನು ಸ್ವಾಧೀನ ಮಾಡಲಾಗಿದೆ ಎಂದರು.
ರೈಲ್ವೆ ಮೇಲ್ಸೇತುವೆ, ಕೆಳಸೇತುವೆ ನಿರ್ಮಾಣ; ಸಾರ್ವಜನಿಕರಿಗೆ ಅನಾನುಕೂಲವಾಗುತ್ತಿರುವ ಕಡೆ ರೈಲ್ವೆ ಇಲಾಖೆಯಿಂದಲೇ ಮೇಲ್ಸೇತುವೆ ಹಾಗೂ ಕೆಳಸೇತುವೆಗಳನ್ನು ನಿರ್ಮಾಣ ಮಾಡಲಾಗುತ್ತದೆ. ದಾವಣಗೆರೆ ನಗರದ ಅಶೋಕ ಟಾಕೀಸ್ ಹತ್ತಿರ ರೈಲ್ವೆ ಲೈನ್ ಕೆಳಸೇತುವೆಗೆ ಸಂಪರ್ಕ ರಸ್ತೆ ನಿರ್ಮಾಣದ ಭೂ ನೇರ ಖರೀದಿಗೆ ರೂ.23.09 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದ್ದು ಆದಷ್ಟು ಬೇಗ ಈ ಕಾಮಗಾರಿ ಮಾಡಲು ಅನುವು ಮಾಡಿಕೊಡಲಾಗುತ್ತದೆ ಎಂದರು.
ರೈಲ್ವೆ ವೇಗ ಹೆಚ್ಚಿಸಲು ಕ್ರಮ; ರೈಲ್ವೆ ಇಂಜಿನ್‍ಗಳು ಬಹುತೇಕ ಶೇ 98 ರಷ್ಟು ವಿದ್ಯುತ್ ಚಾಲಿತವಾಗಿದ್ದು ಶೇ 2 ರಷ್ಟು ಮಾತ್ರ ಡೀಸೆಲ್ ಇಂಜಿನ್‍ಗಳಿವೆ. ರೈಲ್ವೆ ಪ್ರಯಾಣದ ವೇಗ ಪ್ರಸ್ತುತ 110 ಕಿ.ಮೀ ಇದ್ದು ಇದನ್ನು 135 ಕಿ.ಮೀ ವರೆಗೆ ವೇಗ ಹೆಚ್ಚಿಸುವ ಗುರಿಯೊಂದಿಗೆ ಮೂಲಭೂತ ಸೌಕರ್ಯಗಳ ಅಭಿವೃದ್ದಿ ಮಾಡಲಾಗುತ್ತಿದೆ. ವಂದೇ ಭಾರತ್ ರೈಲು ಬಡುವರು, ಮಧ್ಯಮ ವರ್ಗದವರಿಗೆ ತುರ್ತು ಪ್ರಯಾಣಕ್ಕಾಗಿ ಕೈಗೆಟಕುವ ದರದಲ್ಲಿ ಟಿಕೆಟ್ ಇದ್ದು ಇದರಲ್ಲಿ ನೀಡಲಾಗಿರುವ ಸೌಲಭ್ಯಗಳ ಬಗ್ಗೆ ಅರಿಯಲು ಪ್ರಯಾಣಿಸಬೇಕೆಂದರು.
ಕನ್ನಡದಲ್ಲೆ ರೈಲ್ವೆ ಪರೀಕ್ಷೆ; ರೈಲ್ವೆ ಇಲಾಖೆಯಲ್ಲಿ ಒಟ್ಟು 12 ಲಕ್ಷ ಹುದ್ದೆಗಳಿದ್ದು 15 ಲಕ್ಷ ಜನರು ಪಿಂಚಣಿ ಪಡೆಯುತ್ತಿದ್ದಾರೆ. ಖಾಲಿ ಇರುವ 16 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ. ಈ ಪರೀಕ್ಷೆಯನ್ನು ಕನ್ನಡದಲ್ಲಿಯೇ ಬರೆಯಲು ಆದೇಶ ನೀಡಲಾಗಿದ್ದು ನಮ್ಮ ರಾಜ್ಯದ ಯುವಕರು ಇದರ ಉಪಯೋಗ ಪಡೆದುಕೊಳ್ಳಬೇಕು, ಮುಂದಿನ ದಿನಗಳಲ್ಲಿ ಖಾಲಿ ಇರುವ 46 ಸಾವಿರ ಹುದ್ದೆಗಳ ಭರ್ತಿ ಮಾಡಲಾಗುತ್ತದೆ ಎಂದರು.
ದಾವಣಗೆರೆ ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ ಸಭೆಯಲ್ಲಿ ಮಾತನಾಡಿ ದಾವಣಗೆರೆ ನಗರದಲ್ಲಿನ ಮೀನು ಮಾರುಕಟ್ಟೆ ಬಳಿ ರೈಲ್ವೆ ಮೇಲ್ಸೇತುವೆ ಅಥವಾ ಕೆಳಸೇತುವೆ ಅಗತ್ಯವಾಗಿದೆ. ಅಶೋಕ ಟಾಕೀಸ್ ಹತ್ತಿರ ರಸ್ತೆ ಕಿರಿದಾಗಿದ್ದು ಸಂಪರ್ಕ ರಸ್ತೆ ನಿರ್ಮಾಣ ಮಾಡಬೇಕು, ಲಿಂಗೇಶ್ವರ ದೇವಸ್ಥಾನದ ಹತ್ತಿರ ಪಾದಚಾರಿ ಮಾರ್ಗ ನಿರ್ಮಿಸಲು, ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ಹೊಸ ಮಾರ್ಗದಲ್ಲಿ ಸೂರಗೊಂಡನಕೊಪ್ಪ ಅಥವಾ ನ್ಯಾಮತಿಯಲ್ಲಿ ರೈಲ್ವೆ ನಿಲ್ದಾಣಕ್ಕೆ ಅವಕಾಶ ಮಾಡಲು, ಹರಿಹರದಲ್ಲಿನ ರೈಲ್ವೆ ಆಸ್ಪತ್ರೆ, ಸ್ಕೂಲ್ ಮೇಲ್ದರ್ಜೆಗೇರಿಸಲು ರೈಲ್ವೆ ಸಚಿವರಲ್ಲಿ ಮನವಿ ಮಾಡಿದರು.
ಹರಿಹರ ಶಾಸಕರಾದ ಬಿ.ಪಿ.ಹರೀಶ್ ಹೊಸಪೇಟೆ ಹೋಗುವ ಹೆದ್ದಾರಿಯಲ್ಲಿ ಒಂದೇ ರೈಲ್ವೆ ಸೇತುವೆ ಇದ್ದು ಮತ್ತೊಂದು ಬ್ರಿಡ್ಜ್ ನಿರ್ಮಾಣ ಮಾಡಬೇಕು, ಮಳೆ ಬಂದಾಗ ಈ ಮಾರ್ಗದ ವಾಹನಗಳಿಗೆ ತೊಂದರೆಯಾಗುವುದರಿಂದ ರೈಲ್ವೆ ಸೇತುವೆಯ ಅವಶ್ಯಕತೆ ಇದೆ ಎಂದರು.
ಸಭೆಯಲ್ಲಿ ಮೇಯರ್ ಚಮನ್ ಸಾಬ್, ದೂಡಾ ಅಧ್ಯಕ್ಷರಾದ ದಿನೇಶ್ ಕೆ.ಶೆಟ್ಟಿ, ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂತ್, ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್, ರೈಲ್ವೆ ಹಿರಿಯ ಅಧಿಕಾರಿ ಶರ್ಮಾ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ6 days ago
ಅಕ್ಟೋಬರ್ 2 ರಂದು ’ಗಾಂಧಿ ನಡಿಗೆ’ ಮತ್ತು ’ಸ್ವಚ್ಛತಾ ಪ್ರತಿಜ್ಞೆ’ ಆಯೋಜಿಸಲು ರಾಜ್ಯ ಸರ್ಕಾರ ನಿರ್ಧಾರ
-
ದಿನದ ಸುದ್ದಿ5 days ago
ಕೊರೋನಾ ಸಂದರ್ಭದಲ್ಲಿ ಬಡವರನ್ನು ಬದುಕಿಸಿದ್ದು ನರೇಗಾ ಮತ್ತು ಅನ್ನಭಾಗ್ಯ : ಸಿಎಂ ಸಿದ್ದರಾಮಯ್ಯ
-
ದಿನದ ಸುದ್ದಿ4 days ago
ವಿಜಯನಗರ | ಹೊಸಪೇಟೆಯಲ್ಲಿ ಶೇ.50ರಷ್ಟು ಏಡ್ಸ್ ರೋಗಿಗಳು ಪತ್ತೆ
-
ದಿನದ ಸುದ್ದಿ5 days ago
ದೇಶದ ಕೃಷಿ ವಿಜ್ಞಾನ ಕೇಂದ್ರಗಳಿಗೆ 50 ವರ್ಷ ; ದಾವಣಗೆರೆಯಲ್ಲಿ ಸಸ್ಯ ಸಂತೆ ಆಯೋಜನೆ
-
ದಿನದ ಸುದ್ದಿ5 days ago
ಲೋಕಾಯುಕ್ತದಲ್ಲಿರುವ ಮೂಡಾ ಪ್ರಕರಣದ ತನಿಖೆಯಲ್ಲಿ ಯಾವುದೇ ಹಸ್ತಕ್ಷೇಪ ಇಲ್ಲ : ಸಿಎಂ ಸಿದ್ದರಾಮಯ್ಯ
-
ದಿನದ ಸುದ್ದಿ3 days ago
ಗ್ರಾಮಾಂತರ ಕೈಗಾರಿಕಾ ಇಲಾಖೆಯಿಂದ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ5 days ago
ಜೀವನಶೈಲಿಯಲ್ಲಾದ ಬದಲಾವಣೆಯೇ ಹೃದಯ ಸಂಬಂಧಿ ಖಾಯಿಲೆಗಳಿಗೆ ಕಾರಣ : ಸಂಸದ ಡಾ. ಸಿ.ಎನ್. ಮಂಜುನಾಥ್
-
ದಿನದ ಸುದ್ದಿ5 days ago
ಆತ್ಮಕತೆ | ಕೇಂದ್ರದಲ್ಲಿ ಮೂಡಿ ಮಡಿದವರು