ದಿನದ ಸುದ್ದಿ

5 ಕ್ಷೇತ್ರಗಳಲ್ಲೂ ಮೈತ್ರಿ ಅಭ್ಯರ್ಥಿಗಳು ಗೆಲುವು; ಸಿದ್ದರಾಮಯ್ಯ ವಿಶ್ವಾಸ

Published

on

ಸುದ್ದಿದಿನ ದಾವಣಗೆರೆ: ರಾಜ್ಯ ಮತ್ತು ರಾಷ್ಟ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ದಲಿತರು ಮತ್ತು ಅಲ್ಪಸಂಖ್ಯಾತ ಜನಾಂಗಕ್ಕೆ ಭಯದ ವಾತಾವರಣ ನಿರ್ಮಾಣವಾಗಲಿದೆ. ಇದನ್ನು ತಡೆಯುವುದಕ್ಕಾಗಿ ಜಾತ್ಯತೀತ ಶಕ್ತಿಗಳು ಧ್ರುವೀಕರಣಕ್ಕೆ ಮುಂದಾಗಿದ್ದು, ಇದಕ್ಕೆ ರಾಜ್ಯದ ಉಪ ಚುನಾವಣೆ ಬುನಾದಿಯಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ನವೆಂಬರ್3ರಂದು ನಡೆಯಲಿರುವ ಮೂರು ಲೋಕಸಭೆ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಜೆಡಿಎಸ್- ಕಾಂಗ್ರೆಸ್ ಪಕ್ಷಗಳ ಮೈತ್ರಿ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದ ಜನತೆ ಯಾವುದೇ ಪಕ್ಷಕ್ಕೆ ಸ್ಪಷ್ಟ ಬಹುಮತ ನೀಡಲಿಲ್ಲ. ಕಾಂಗ್ರೆಸ್‌ಗೆ ಶೇ.38, ಬಿಜೆಪಿಗೆ ಶೇ. 36.7, ಜೆಡಿಎಸ್‌ಗೆ ಶೇ.19ರಷ್ಟು ಮತದಾರರು ಬೆಂಬಲ ಸೂಚಿಸಿ, ಬಿಜೆಪಿಗೆ 104 ಸ್ಥಾನಗಳಲ್ಲಿ ಜಯ ದೊರಕಿಸಿದ್ದರು. ಕಾಂಗ್ರೆಸ್ ಹಾಗೂ ಜೆಡಿಎಸ್ ಸಂಖ್ಯಾಬಲದ ಆಧಾರದ ಮೇಲೆ ಮೈತ್ರಿ ಸರ್ಕಾರ ರಚಿಸಿವೆ ಎಂದು ತಿಳಿಸಿದರು.

ಕರ್ನಾಟಕದಲ್ಲಿ ಜಾತ್ಯತೀತ ಶಕ್ತಿಗಳು ಒಂದುಗೂಡಿದ್ದು, ದೇಶದಲ್ಲೂ ಹೊಂದಾಣಿಕೆ ಆಗಬೇಕೆಂಬುದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಉದ್ದೇಶವಾಗಿದೆ. 2019ರ ಲೋಕಸಭೆ ಚುನಾವಣೆಯಲ್ಲಿ ಜಾತ್ಯತೀತ ಶಕ್ತಿಗಳು ಮೈತ್ರಿ ಮಾಡಿಕೊಳ್ಳಬೇಕೆಂಬ ನಿರ್ಣಯದೊಂದಿಗೆ ಅಧಿಕಾರ ನಡೆಸುತ್ತಿದ್ದೇವೆ. ಈ ಹಿನ್ನೆಲೆಯಲ್ಲಿ ಉಪ ಚುನಾವಣೆಯಲ್ಲಿ ಮೂರು ಸ್ಥಾನಗಳನ್ನು ಜೆಡಿಎಸ್‌ಗೆ, ಎರಡು ಸ್ಥಾನಗಳಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳು ಸ್ಪರ್ಧಿಸಿದ್ದು, ಐದು ಕ್ಷೇತ್ರಗಳಲ್ಲಿ ಉಭಯ ಪಕ್ಷದ ಮುಖಂಡರು, ಕಾರ್ಯಕರ್ತರು ಪ್ರಚಾರ ನಡೆಸಿ, ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಲಿದ್ದಾರೆ. ಇದರಲ್ಲಿ ಯಾವುದೇ ಅನುಮಾನ ಇಲ್ಲ ಎಂದರು.

Trending

Exit mobile version