ದಿನದ ಸುದ್ದಿ
ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಗಳು ಸ್ಥಗಿತ ; ಬಿಜೆಪಿ ಅಧಿಕಾರ ದುರುಪಯೋಗ : ಖರ್ಗೆ ಕಿಡಿ
ಸುದ್ದಿದಿನ, ದೆಹಲಿ : ಲೋಕಸಭೆ ಚುನಾವಣೆ ವೇಳೆ ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿರುವುದರಿಂದ ಚುನಾವಣಾ ಖರ್ಚುವೆಚ್ಚ ನಿರ್ವಹಣೆಯಲ್ಲಿ ಪಕ್ಷಕ್ಕೆ ಹಿನ್ನಡೆಯಾಗುತ್ತಿದೆ.
ಆಡಳಿತ ಪಕ್ಷ ಬಿಜೆಪಿಗೆ ಅನುಕೂಲವಾಗುವಂತೆ ಮಾಡಲಾಗಿದೆ. ಬಿಜೆಪಿ ಈ ವಿಷಯದಲ್ಲಿ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗುರುವಾರ ಟೀಕಿಸಿದ್ದಾರೆ.
ದೆಹಲಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಸಾರ್ವತ್ರಿಕ ಚುನಾವಣೆ ವೇಳೆ ಹಣಕಾಸು ಬಳಕೆಯಲ್ಲಿ ಎಲ್ಲ ರಾಜಕೀಯ ಪಕ್ಷಗಳಿಗೂ ಸಮಾನ ಅವಕಾಶಗಳು ಇರಬೇಕು ಸ್ಥಗಿತಗೊಳಿಸಲಾಗಿರುವ ತಮ್ಮ ಪಕ್ಷದ ಬ್ಯಾಂಕ್ ಖಾತೆಗಳನ್ನು ತಕ್ಷಣ ಮತ್ತೆ ಸಕ್ರಿಯಗೊಳಿಸಬೇಕು ಎಂದು ಆಗ್ರಹಪಡಿಸಿದರು.
ಮತ್ತೊಂದೆಡೆ, ಬಿಜೆಪಿ ನಾಯಕ ರವಿಶಂಕರ್ ಪ್ರಸಾದ್ ಮಾತನಾಡಿ, ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿರುವಲ್ಲಿ ಬಿಜೆಪಿಯ ಪಾತ್ರವಿಲ್ಲ. ಇದು, ಕಾಂಗ್ರೆಸ್ ತೆರಿಗೆ ಪಾವತಿಸಿಲ್ಲ ಎನ್ನುವ ಕಾರಣಕ್ಕೆ ಆದಾಯ ತೆರಿಗೆ ಇಲಾಖೆ ತೆಗೆದುಕೊಂಡಿರುವ ಕ್ರಮವಾಗಿದೆ. ಕಾಂಗ್ರೆಸ್ ನಾಯಕರು ಕಾರಣವಿಲ್ಲದೇ ಬಿಜೆಪಿಯ ಮೇಲೆ ಆರೋಪ ಹೊರಿಸುತ್ತಿದ್ದಾರೆ ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243