ದಿನದ ಸುದ್ದಿ
ಅಪರಾಧ ಕೃತ್ಯ ತಡೆಯಲು ಎಲ್ಲ ರಾಜ್ಯಗಳ ಪೊಲೀಸರ ನಡುವೆ ಪರಸ್ಪರ ಸಹಕಾರ ಅತ್ಯಗತ್ಯ : ಅಮಿತ್ ಷಾ
ಸುದ್ದಿದಿನ ಡೆಸ್ಕ್ : ಸ್ಮಾರ್ಟ್ ಪೊಲೀಸಿಂಗ್ ವ್ಯವಸ್ಥೆಗೆ ಎಲ್ಲ ರಾಜ್ಯಗಳ ಪೊಲೀಸ್ ವ್ಯವಸ್ಥೆ ನಡುವೆ ಪರಸ್ಪರ ಸಹಕಾರ ಮತ್ತು ಸಂಯೋಜನೆ ಅತ್ಯಗತ್ಯ ಎಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ಹೇಳಿದ್ದಾರೆ.
ಮಧ್ಯಪ್ರದೇಶದ ಭೋಪಾಲ್ನ ಕೇಂದ್ರೀಯ ಪೊಲೀಸ್ ತರಬೇತಿ ಅಕಾಡೆಮಿಯಲ್ಲಿ ಪೊಲೀಸ್ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ಇಂದು ಏರ್ಪಡಿಸಿದ್ದ 48ನೇ ಅಖಿಲ ಭಾರತ ಪೊಲೀಸ್ ಸೈನ್ಸ್ ಕಾಂಗ್ರೆಸ್ ಉದ್ಘಾಟಿಸಿ ಅವರು ಮಾತನಾಡಿದರು.
ದೇಶದಲ್ಲಿ ಜ್ಞಾನಾಧಾರಿತ, ಸಾಕ್ಷ್ಯಾಧಾರಿತ ಹಾಗೂ ಕ್ಷಿಪ್ರ ಪೊಲೀಸ್ ವ್ಯವಸ್ಥೆಯ ಅಗತ್ಯವಿದೆ. ಹೀಗಾದಾಗ ಮಾತ್ರ ನವಯುಗದಲ್ಲಿ ನಡೆಯುತ್ತಿರುವ ಅಪರಾಧ ಪ್ರಕರಣಗಳನ್ನು ಪರಿಣಾಮಕಾರಿಯಾಗಿ ತಡೆಗಟ್ಟಬಹುದಾಗಿದೆ ಎಂದು ಅಮಿತ್ ಷಾ ಹೇಳಿದರು.
ವಿಶ್ವದ ಅಪರಾಧ ಕೃತ್ಯಗಳಿಗೆ ಇದೀಗ ಸೈಬರ್ ಅಪರಾಧ ಮತ್ತು ಮಾದಕ ವಸ್ತುಗಳಂತಹ ಅಪರಾಧಗಳು ಸೇರ್ಪಡೆಗೊಂಡಿವೆ. ಇವುಗಳನ್ನು ನಿಯಂತ್ರಿಸುವುದು ಆಯಾ ರಾಜ್ಯ ಸರ್ಕಾರಗಳ ಜವಾಬ್ದಾರಿಯಾದರೂ ಎಲ್ಲ ರಾಜ್ಯಗಳ ಪೊಲೀಸ್ ಸಿಬ್ಬಂದಿ ನಡುವೆ ಪರಸ್ಪರ ಸಹಕಾರ ಮತ್ತು ಏಕರೂಪತೆ ಅತ್ಯವಶ್ಯ ಎಂದು ತಿಳಿಸಿದರು. ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
Inaugurated the FICCI Tech Expo at the 48th All India Police Science Congress today in CAPT Bhopal. pic.twitter.com/TFFwSx3fhh
— Amit Shah (@AmitShah) April 22, 2022
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಕರ್ನಾಟಕ ಜಾಹೀರಾತು ನೀತಿಗೆ ಸಂಪಾದಕರ ವಿರೋಧ ; ಸಿಎಂಗೆ ಮನವಿ
ನೀತಿಯನ್ನು ಪರಿಶೀಲಿಸುವ ಭರವಸೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಸುದ್ದಿದಿನ,ದಾವಣಗೆರೆ: ಕರ್ನಾಟಕ ಜಾಹೀರಾತು ನೀತಿ-2026 ರಲ್ಲಿ ಪತ್ರಿಕೆಗಳಿಗೆ ಮಾರಕವಾದ ನಿಯಮಗಳನ್ನು ಕೈಬಿಡುವಂತೆ ಕೋರಿ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ದಾವಣಗೆರೆ ಜಿಲ್ಲಾ ವರದಿಗಾರರ ಕೂಟದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸೋಮವಾರ ಮಧ್ಯಾಹ್ನ ನಗರದ ಎಂ.ಬಿ.ಎ ಗ್ರೌಂಡ್ ಹೆಲಿಪ್ಯಾಡ್ ನಲ್ಲಿ ಮನವಿ ಸಲ್ಲಿಸಲಾಯಿತು.
ರಾಜ್ಯದಲ್ಲಿ ಜಾರಿಗೆ ತರಲು ಹೊರಟಿರುವ ಕರ್ನಾಟಕ ಜಾಹೀರಾತು ನೀತಿ-2026 ಜಿಲ್ಲಾ ಮಟ್ಟದ ಮತ್ತು ಪ್ರಾದೇಶಿಕ ಮಟ್ಟದ ಪತ್ರಿಕೆಗಳಿಗೆ ಮಾರಕವಾಗಿದ್ದು,ಇದರಿಂದ ಶತಶತಮಾನಗಳಿಂದ ಸಮಾಜದ ಮತ್ತು ಸರ್ಕಾರದ ಕೊಂಡಿಯಾಗಿ ಸೇವೆ ಮಾಡುತ್ತಿರುವ ಪತ್ರಿಕೆಗಳು ಮುಚ್ಚುತ್ತವೆ. ಯಾವುದೇ ಕಾರಣಕ್ಕೂ ಪತ್ರಿಕೆಗಳಿಗೆ ಮಾರಕವಾಗುವ ನಿಯಮಗಳನ್ನು ಅಳವಡಿಸದೇ ಪತ್ರಿಕೆಗಳ ಏಳಿಗೆಗೆ ಪೂರಕವಾದ ಅಂಶಗಳನ್ನು ಸೇರಿಸಿ ಕರ್ನಾಟಕ ಜಾಹೀರಾತು ನೀತಿಯನ್ನು ಜಾರಿಗೆ ತರಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ , ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರಿಗೆ ಮನವರಿಕೆ ಮಾಡಿಕೊಡಲಾಯಿತು.
ಸಂಘಗಳ ಮನವಿ ಸ್ವೀಕರಿಸಿದ ಮುಖ್ಯಮಂತ್ರಿಗಳು ಜಾಹೀರಾತು ನೀತಿ ಪರಿಶೀಲಿಸುವ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘದ ರಾಜ್ಯಾಧ್ಯಕ್ಷರಾದ ಎ.ಸಿ.ತಿಪ್ಪೇಸ್ವಾಮಿ, ಜಿಲ್ಲಾ ಘಟಕದ ಅಧ್ಯಕ್ಷರಾದ ಸುರೇಶ್ ಆರ್ ಕುಣೆಬೆಳಕೆರೆ, ಖಜಾಂಜಿ ಶಿವಮೂರ್ತಿ ಟಿ.ಜಿ , ರಾಜ್ಯ ಸಂಘದ ನಾಮನಿರ್ದೇಶನ ಸದಸ್ಯ ಕೆ.ಜೈಮುನಿ ಮತ್ತು
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಅಧ್ಯಕರಾದ ಇ.ಎಂ.ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಬದ್ರಿನಾಥ್, ಖಜಾಂಚಿ ಜೆ.ಎಸ್.ವೀರೇಶ್ ಹಾಗೂ ದಾವಣಗೆರೆ ಜಿಲ್ಲಾ ವರದಿಗಾರರ ಕೂಟದ ಅಧ್ಯಕ್ಷರಾದ ನಾಗರಾಜ ಬಡದಾಳ್ , ಹಿರಿಯ ಪತ್ರಕರ್ತರಾದ ಕೆ.ಏಕಾಂತಮ್ಮ, ಬಿ.ಎನ್.ಮಲ್ಲೇಶ್, ಮಲ್ಲಿಕಾರ್ಜುನ ಕಬ್ಬೂರು, ಆರ್.ಎಸ್.ತಿಪ್ಪೇಸ್ವಾಮಿ, ಕೊಟ್ರೇಶ್ ಅಣಬೂರುಮಠ, ನಿಂಗಪ್ಪ, ಗೋವಿಂದ ರಾಜು, ಫಕೃದ್ದೀನ್, ಆರ್.ರವಿ,ಬಿ.ವಾಸುದೇವ, ರಾಘವೇಂದ್ರ ರಾವ್, ವೇದಮೂರ್ತಿ,ನಿಂಗಪ್ಪ, ಪರಶುರಾಮ, ನಂದಕುಮಾರ್ ಮುಂತಾದವರು ಇದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಹರಿಹರ ನಗರಸಭೆಯು 04 ಸಂಖ್ಯಾತಿರಿಕ್ತ ಪೌರಕಾರ್ಮಿಕರ ಹುದ್ದೆಗಳನ್ನು ವಿಶೇಷ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಪ್ರಸ್ತುತ ಹರಿಹರ ನಗರಸಭೆಯಲ್ಲಿ ಕೆಲಸ ನಿರ್ವಹಿಸುತ್ತಿರುವವರು ಹಾಗೂ ಈ ನಿಯಮ ಜಾರಿಗೆ ಬಂದ ದಿನಾಂಕದಲ್ಲಿಯೂ ಸದರಿ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಮಾರ್ಚ್ 11 ರಿಂದ ಅರ್ಜಿಗಳನ್ನು ಪಡೆದುಕೊಳ್ಳಬಹುದು.
ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಏಪ್ರಿಲ್ 10 ಕಡೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಅರ್ಜಿಗಳನ್ನು ಹರಿಹರ ನಗರಸಭೆ ಕಚೇರಿಯಿಂದ ಮಾತ್ರ ಪಡೆದುಕೊಳ್ಳಬೇಕು. ಹುದ್ದೆಗಳ ವರ್ಗೀಕರಣ, ಷರತ್ತುಗಳು, ವಯೋಮಿತಿ ಮತ್ತು ಅಗತ್ಯ ಅರ್ಹತೆಗಳ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಕಚೇರಿ ಸಮಯದಲ್ಲಿ ಹರಿಹರ ನಗರಸಭೆ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ದಾವಣಗೆರೆಯ ಜಿಲ್ಲಾಧಿಕಾರಿಗಳು ಹಾಗೂ ಆಯ್ಕೆ ಮತ್ತು ನೇರ ನೇಮಕಾತಿ ಪ್ರಾಧಿಕಾರದ ಅಧ್ಯಕ್ಷರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಇಲಾಖೆಯ ಜಂಟಿ ನಿರ್ದೇಶಕ ರಮೇಶ್ ದೇಸಾಯಿ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ:ಪ್ರಾಚಾರ್ಯರು ಹಾಗೂ ಸಾರ್ವಜನಿಕ ಮಾಹಿತಿ ಅಧಿಕಾರಿಗಳು, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರ ಸಹಿಯನ್ನು ತನಿಖೆಗೆ ಒಳಪಡಿಸುವಂತೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದ ಹುಬ್ಬಳ್ಳಿಯ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಇಲಾಖೆಯ ಜಂಟಿ ನಿರ್ದೇಶಕರಾದ ರಮೇಶ್ ದೇಸಾಯಿ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ವಕೀಲ ಡಾ.ಕೆ.ಎ.ಓಬಳಪ್ಪ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇಲ್ಲಿ ಅಧ್ಯಯನ ಮಾಡಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಹಾಗೂ ಸರ್ಕಾರದಿಂದ ವಿತರಣೆಯಾದ ಟೂಲ್‌ಕಿಟ್‌ಗಳನ್ನು ನಿಯಮಾನುಸಾರ ವಿತರಣೆ ಮಾಡದೆ ವಂಚಿಸಿರುವ ಅಧಿಕೃತ ಮಾಹಿತಿಯ ಆಧಾರದ ಮೇಲೆ ಸಾರ್ವಜನಿಕ ಮಾಹಿತಿ ಅಧಿಕಾರಿಗಳು, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರಿಗೆ ಮಾಹಿತಿಹಕ್ಕು ಅರ್ಜಿ ಸಲ್ಲಿಸಿ, ಮಾಹಿತಿ ಕೋರಲಾಗಿತ್ತು.
ಪ್ರಾಚಾರ್ಯರು, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರು ನೀಡಿರುವ ಪತ್ರದಲ್ಲಿ ಫಾರ್ ಸಹಿಯೊಂದಿಗೆ ಹಿಂಬರಹ ನೀಡಲಾಗಿರುತ್ತದೆ. ಮಾಹಿತಿ ಅಧಿಕಾರಿ, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರು ನೀಡಿರುವ ಪತ್ರದಲ್ಲಿರುವ ಫಾರ್ ಸಹಿಯೇ ಪ್ರಾಚಾರ್ಯರ ಹೆಸರಿನ ಪತ್ರದಲ್ಲಿ ನಮೂದಾಗಿರುತ್ತದೆ. ಸದರಿ ಸಂಸ್ಥೆಯ ಸಾರ್ವಜನಿಕ ಮಾಹಿತಿ ಅಧಿಕಾರಿ ಪ್ರಾಚಾರ್ಯರೇ ಆಗಿರುತ್ತಾರೆ.
ಹೀಗಿರುವಾಗ ಪಾಚಾರ್ಯರ ಮುದ್ರೆ ಇರುವಲ್ಲಿ ಫಾರ್ ಎಂಬುದಾಗಿ ನಮೂದಿಸಿ ಸಹಿ ಮಾಡಿ, ಮಾಹಿತಿ ಅಧಿಕಾರಿ ಎಂಬ ಮುದ್ರೆಗೆ ಫಾರ್ ಬಳಸದೆ ಸಹಿ ಮಾಡಿರುವುದು ಹಲವು ಅನುಮಾನಕ್ಕೆ ಕಾರಣವಾಗಿ ಈ ಬಗ್ಗೆ ತನಿಖೆ ನಡೆಸುವಂತೆ ಜಂಟಿ ನಿರ್ದೇಶಕರಿಗೆ ದೂರು ನೀಡಲಾಗಿತ್ತು.
ಆದರೆ ಜಂಟಿ ನಿರ್ದೇಶಕರು, ಕೌಶಲ್ಯ ಅಭಿವೃದ್ದಿ ಮತ್ತು ಉದ್ಯೋಗ ಇಲಾಖೆ, ಹುಬ್ಬಳ್ಳಿ ಇವರಿಗೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ದೂರು ಅರ್ಜಿಗೆ ಸಂಬಂಧಿಸಿದಂತೆ ಯಾವುದೇ ಕ್ರಮ ಕೈಗೊಂಡ ಮಾಹಿತಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ದೂರು ನೀಡಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243


