ದಿನದ ಸುದ್ದಿ

ಕೊರೊನಾ ಹೆಚ್ಚಳ ಹಿನ್ನೆಲೆ ಕರ್ನಾಟಕದ ವಿಮಾನ ನಿಲ್ದಾಣಗಳು, ಗಡಿ ಜಿಲ್ಲೆಗಳಲ್ಲಿ ಮುನ್ನೆಚ್ಚರಿಕೆ ಕ್ರಮ: ಸಿಎಂ ಬೊಮ್ಮಾಯಿ

Published

on

ಸುದ್ದಿದಿನ ಡೆಸ್ಕ್ : ಕರ್ನಾಟಕ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿ ಮತ್ತೆ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಸಾಂಕ್ರಾಮಿಕ ರೋಗದ ನಾಲ್ಕನೇ ಅಲೆಯ ಭೀತಿ ಆವರಿಸಿದೆ.

ಈ ಮಧ್ಯೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೇಂದ್ರದ ಸಲಹೆಯನ್ನು ಆಧರಿಸಿ ರಾಜ್ಯದ ವಿಮಾನ ನಿಲ್ದಾಣಗಳು ಮತ್ತು ಗಡಿ ಜಿಲ್ಲೆಗಳಲ್ಲಿ ಮುನ್ನೆಚ್ಚರಿಕೆ ಮತ್ತು ಕಣ್ಗಾವಲು ಕ್ರಮಗಳನ್ನು ಮತ್ತೆ ಜಾರಿಗೊಳಿಸಬಹುದು ಎಂದು ಮುನ್ಸೂಚನೆ ನೀಡಿದ್ದಾರೆ.

ಕೊರೋನಾ ಹರಡುವುದನ್ನು ತಡೆಯಲು ಜನ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಸೇರಿದಂತೆ ಮುಂಜಾಗ್ರತಾ ಕ್ರಮ ಅನುಸರಿಸಬೇಕು. ಪ್ರತಿಯೊಬ್ಬರೂ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಬೇಕು, ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಹೆಚ್ಚಾಗದ ಕಾರಣ ಆತಂಕ ಪಡುವ ಅಗತ್ಯವಿಲ್ಲ, ಆದರೂ ನಾವು ಕೆಲವು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದ್ದೇವೆ ಎಂದು ಬೊಮ್ಮಾಯಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಹಿಂದಿನ ಮೂರು ಅಲೆಗಳ ಸಮಯದಲ್ಲಿ ನೆರೆಯ ಮಹಾರಾಷ್ಟ್ರ ಮತ್ತು ಕೇರಳದ ಜನರು ಕೋವಿಡ್ ಆತಂಕಕ್ಕೆ ಕಾರಣರಾಗಿದ್ದರು. “ಆದ್ದರಿಂದ, ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ಮೋದಿ ಅವರ ಸಭೆಯ ನಂತರ ಕೇಂದ್ರದ ಸಲಹೆಯನ್ನು ಆಧರಿಸಿ, ರಾಜ್ಯದ ವಿಮಾನ ನಿಲ್ದಾಣಗಳು ಮತ್ತು ಗಡಿ ಜಿಲ್ಲೆಗಳಲ್ಲಿ ವಿಶೇಷವಾಗಿ ಮಹಾರಾಷ್ಟ್ರ, ಕೇರಳ ಗಡಿಯಲ್ಲಿ ಎಲ್ಲಾ ಮುನ್ನೆಚ್ಚರಿಕೆ, ಕಣ್ಗಾವಲು ಕ್ರಮಗಳನ್ನು ಮತ್ತೆ ಜಾರಿಗೊಳಿಸುತ್ತೇವೆ” ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version