ದಿನದ ಸುದ್ದಿ
ಸಹಕಾರ ಇಲಾಖೆಯಿಂದ ಮುಖ್ಯಮಂತ್ರಿ ಪರಿಹಾರ ನಿಧಿಗೆ 52 ಕೋಟಿ : ಸಚಿವ ಎಸ್.ಟಿ.ಸೋಮಶೇಖರ
ಸುದ್ದಿದಿನ, ದಾವಣಗೆರೆ : ಲಾಕ್‍ಡೌನ್ ಆದ ಸಮಯದಲ್ಲಿ ಸಹಕಾರ ಇಲಾಖೆ ವತಿಯಿಂದ ರೂ. 52 ಕೋಟಿ ಹಣ ಸಂಗ್ರಹಿಸಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಿದ್ದೇವೆ ಎಂದು ಸಹಕಾರ ಸಚಿವರಾದ ಎಸ್.ಟಿ ಸೋಮಶೇಖರ ಹೇಳಿದರು.
ಶುಕ್ರವಾರ ಜಿಲ್ಲಾಡಳಿತ ಭವನದ ತುಂಗಭದ್ರಾ ಸಂಭಾಗಣದಲ್ಲಿ ಜಿಲ್ಲಾಡಳಿತ ಹಾಗೂ ಸಹಕಾರ ಇಲಾಖೆ ಮತ್ತು ಜಿಲ್ಲೆಯ ಸಹಕಾರ ಸಂಘಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹಧನ ಚೆಕ್ ವಿತರಣಾ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ರಾಜ್ಯದ ಎಲ್ಲಾ ಆಶಾ ಕಾರ್ಯಕರ್ತೆಯರ ಪ್ರಾಮಾಣಿಕ ಸೇವೆಗೆ ತಲಾ ರೂ. 3 ಸಾವಿರ ಪ್ರೋತ್ಸಾಹ ಧನವನ್ನು ಸಹಕಾರ ಇಲಾಖೆಯಿಂದ ನೀಡುವ ಮೂಲಕ ಗೌರವ ಸಲ್ಲಿಸಲಾಗುತ್ತಿದೆ ಎಂದರು.
ಆಶಾ ಕಾರ್ಯಕರ್ತೆಯರಿಗೆ ಅವರಿರುವ ಜಿಲ್ಲೆಯಲ್ಲಿಯೇ ಡಿಸಿಸಿ ಬ್ಯಾಂಕ್‍ನಿಂದ ಅತೀ ಕಡಿಮೆ ಬಡ್ಡಿಗೆ ಸಾಲ ನೀಡುವ ಬಗ್ಗೆ ಚಿಂತನೆ ಮಾಡಲಾಗಿದೆ. ಬೀದಿ ಬದಿ ವ್ಯಾಪಾರಿಗಳಿಗೆ ರೂ.10 ಸಾವಿರ ಪ್ರೋತ್ಸಾಹ ಧನ ನೀಡುವ ಕಾರ್ಯಕ್ಕೆ ಚಾಲನೆ ನೀಡಲಾಗುತ್ತಿದೆ. ಸ್ತ್ರೀ ಶಕ್ತಿ ಸಂಘ ಹಾಗೂ ಸ್ವಸಹಾಯ ಸಂಘಗಳಿಗೆ ಸಹಕಾರ ಇಲಾಖೆಯಿಂದ ಹಲವು ಉತ್ತಮ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಜೊತೆಗೆ ವೈದ್ಯರು ಮತ್ತು ನರ್ಸ್‍ಗಳಿಗೆ ಮುಂದಿನ ದಿನಗಳಲ್ಲಿ ಸರ್ಕಾರದಿಂದ ಉತ್ತಮ ಸೌಕರ್ಯ ಒದಗಿಸಲಾಗುವುದು ಎಂದರು.
ಜಿಲ್ಲೆಗೆ ಒಳ್ಳೆಯ ಉಸ್ತುವಾರಿ ಸಚಿವರು ಸಿಕ್ಕಿದ್ದಾರೆ. ಅವರು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದು, ಪಕ್ಷಬೇಧ ಮರೆತು ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಅವರ ಮಾರ್ಗದರ್ಶನದಲ್ಲಿ ಜಿಲ್ಲೆಯಲ್ಲಿ ಇನ್ನೂ ಹೆಚ್ಚಿನ ಉತ್ತಮ ಕೆಲಸವಾಗಲಿದೆ ಎಂದು ಪ್ರಶಂಸಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243