Connect with us

ದಿನದ ಸುದ್ದಿ

18 ವರ್ಷದ ಮೇಲ್ಪಟ್ಟ ಎಲ್ಲಾ ವಿಕಲಚೇತನರಿಗೆ ಕೋವಿಡ್ ಲಸಿಕೆ ಕಡ್ಡಾಯ ; ಕೋವಿಡ್ ಲಸಿಕೆ ಜೀವ ರಕ್ಷಕ, ಲಸಿಕೆ ಪಡೆಯಲು ಹಿಂಜರಿಯಬೇಡಿ : ಪ್ರವೀಣ್ ನಾಯಕ್

Published

on

ಸುದ್ದಿದಿನ,ದಾವಣಗೆರೆ : ಕೋವಿಡ್-19 ಕೊರೋನಾ ಸೋಂಕು ತಡೆಗಟ್ಟಲು ಜಿಲ್ಲೆಯಲ್ಲಿರುವ 18 ವರ್ಷ ಮೇಲ್ಪಟ್ಟ ಎಲ್ಲಾ ವಿಕಲಚೇತನರಿಗೆ ಹಾಗೂ ವಿಕಲ ಚೇತನರ ಆರೈಕೆದಾರರಿಗೆ ಆದ್ಯತೆಯ ಮೇರೆಗೆ ಕೋವಿಡ್-19 ಲಸಿಕೆ ನೀಡಲಾಗುತ್ತಿದ್ದು, ಅದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕಾನೂನು ಸೇವಾ ಪ್ರಾಧಿಕಾರದ ಪ್ರಭಾರ ಸದಸ್ಯ ಕಾರ್ಯದರ್ಶಿ ಪ್ರವೀಣ್ ನಾಯಕ್ ತಿಳಿಸಿದರು.

ಬುಧವಾರ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಮತ್ತು ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯ ವತಿಯಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಉಪನಿರ್ದೇಶಕರ ಕಚೇರಿ ಆವರಣದಲ್ಲಿ ಏರ್ಪಡಿಸಿದ್ದ ವಿಕಲಚೇತನರಿಗೆ ಲಸಿಕೆ ಜಾಗೃತಿ ಅಭಿಯಾನವನ್ನು ಉದ್ದೇಶಿಸಿ ಮಾತನಾಡಿದರು.

ಉಚ್ಚನ್ಯಾಯಲದ ನ್ಯಾಯಧೀಶರಾದ ಕೆ.ಎನ್.ಫಣೀಂದ್ರ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ ಮಾನಸಿಕವಾಗಿ ಹಾಗೂ ದೈಹಿಕವಾಗಿ ಅಂಗವಿಲತೆ ಹೊಂದಿರುವವರಿಗೆ ಕಾನೂನು ಸೇವಾ ಪ್ರಾಧಿಕಾರದಿಂದ ಸಹಾಯ ಮಾಡುವಂತೆ ನಿರ್ದೇಶನ ನೀಡಲಾಗಿದ್ದು, ಅದರಂತೆ ಎಲ್ಲಾ ವಿಕಲಚೇತನರಿಗೆ ಲಸಿಕೆ ಹಾಕಿಸಿಕೊಳ್ಳಲು ಜಾಗೃತಿ ಅಭಿಯಾನವನ್ನು ಹಮ್ಮಿಕೊಳ್ಳುತ್ತಿದ್ದೇವೆ.

ಸಾಮಾನ್ಯ ಜನರಿಗೆ ಕೊರೊನಾ ಸೋಂಕು ತಗುಲಿದರೆ ಬೇಗ ಗುಣಮುಖರಾಗುತ್ತಾರೆ. ಆದರೆ ಅಂಗವಿಕಲರು ಔಷಧಿಗಳನ್ನು ಪಡೆಯುತ್ತಿದ್ದು ಅವರಿಗೆ ಸೋಂಕು ತಗುಲಿದರೆ ಜೀವಕ್ಕೆ ತೀವ್ರ ಹಾನಿ ಉಂಟಾಗುವ ಸಂಭವವಿರುವುದರಿಂದ ವಿಕಲಚೇತನರು ತಡಮಾಡದೇ ಲಸಿಕೆಯನ್ನು ಹಾಕಿಸಿಕೊಳ್ಳಲು ಮುಂದೆ ಬರಬೇಕು ಎಂದು ಕರೆ ನೀಡಿದರು.

ವಿಕಲಚೇತನರ ಆರೈಕೆದಾರರಿಗೂ ಲಸಿಕೆ ನೀಡಲಾಗುತ್ತಿದ್ದು ಲಸಿಕಾ ಕೇಂದ್ರಕ್ಕೆ ಆಗಮಿಸುವಾಗ ಕಡ್ಡಾಯವಾಗಿ ಗುರುತಿನ ಚೀಟಿ ಹಾಗೂ ಆಧಾರ್ ಕಾರ್ಡ್ ನ್ನು ತಪ್ಪದೇ ತರಬೇಕು. ಒಂದು ವೇಳೆ ಗುರುತಿನ ಚೀಟಿ ಇಲ್ಲದವರು ಅನುಬಂಧ 4ನೇ ನಮೂನೆಯಡಿಯಲ್ಲಿ ಹೆಸರನ್ನು ನೊಂದಯಿಸಿಕೊಂಡು ಲಸಿಕೆ ಪಡೆಯಬಹುದು ಎಂದು ತಿಳಿಸಿದರು.

ಬುದ್ಧಿಮಾಂದ್ಯ ಮತ್ತು ಮಾನಸಿಕ ಅಸ್ವಸ್ಥರು ಮತ್ತು ಅವರ ಆರೈಕೆದಾರರು ಕಡ್ಡಾಯವಾಗಿ ಲಸಿಕೆ ಹಾಕಿಸಿಕೊಳ್ಳಬೇಕು. ಒಂದು ವೇಳೆ ಲಸಿಕಾ ಕೇಂದ್ರಕ್ಕೆ ಆಗಮಿಸಲು ಆಗದೆ ಇರುವಂತಹ ವಿಕಲಚೇತನರಿಗೆ ಮನೆ ಬಾಗಿಲಿಗೆ ಬಂದು ಲಸಿಕೆಯನ್ನು ಹಾಕಲಾಗುವುದು. ಅಂತಹವರು ಅಂಗವಿಕಲರ ಕಲ್ಯಾಣ ಇಲಾಖೆಯ ದೂರವಾಣಿ ಸಂಖ್ಯೆ 263939 ಅಥವಾ 263936 ಕ್ಕೆ ಕರೆ ಮಾಡಿ ನೋಂದಣಿ ಮಾಡಿಸಿಕೊಳ್ಳಬೇಕು ಎಂದು ಮಾಹಿತಿ ನೀಡಿದರು.

ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜಿ.ಎಸ್. ಶಶಿಧರ್ ಪ್ರಾಸ್ತವಿಕವಾಗಿ ಮಾತನಾಡಿ, ಅಂಗವೈಕಲ್ಯದಿಂದಾಗಿ ಪ್ರಯಾಣಿಸಲು ಸಾಧ್ಯವಾಗದ ವ್ಯಕ್ತಿಗಳ ಪ್ರಕರಣಗಳಲ್ಲಿ ಮನೆ ಬಾಗಿಲಿಗೆ ಲಸಿಕೆ ನೀಡಲಾಗುತ್ತದೆ. ಕೊರೊನಾ ಸೋಂಕು ತಡೆಗಟ್ಟಲು ಹೈಕೋರ್ಟ್ ನಿರ್ದೇಶನದ ಮೆರೆಗೆ ರಾಜ್ಯ ಸರ್ಕಾರವು 18 ವರ್ಷ ಮೇಲ್ಪಟ್ಟ ವಿಕಲಚೇತನರಿಗೆ ಕೋವಿಡ್-19 ನಿಗ್ರಹ ಲಸಿಕೆಯನ್ನು ಜಿಲ್ಲಾ ಚಿಗಟೇರಿ ಆಸ್ಪತ್ರೆಯ ಆವರಣದಲ್ಲಿರುವ ಮಕ್ಕಳ ಆಸ್ಪತ್ರೆಯಲ್ಲಿ ಪ್ರತಿದಿನ 100 ಜನರಿಗೆ ಆದ್ಯತೆಯ ಮೇಲೆ ಲಸಿಕೆ ನೀಡಲಾಗುತ್ತಿದ್ದು, ಅದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದರು.

ವಿಕಲಚೇತನರಿಗೆ ಲಸಿಕೆ ಪಡೆಯುವಲ್ಲಿ ಹಿಂಜರಿಕೆ ಇದ್ದು ಮನೆಗೆ ಹೋಗಿ ತಿಳಿಸಿದರು ಸಹ ಲಸಿಕೆ ಹಾಕಿಸಿಕೊಳ್ಳಲು ಮುಂದೆ ಬರುತ್ತಿಲ್ಲ. ಆದ್ದರಿಂದ ಪ್ರಧಾನ ಸತ್ರ ನ್ಯಾಯಧೀಶರ ಆದೇಶದಂತೆ ಲಸಿಕೆ ಹಾಕಿಸಿಕೊಳ್ಳುವ ಬಗ್ಗೆ ಈ ಮೂಲಕ ಅರಿವು ಮೂಡಿಸಲಾಗುತ್ತಿದೆ ಎಂದು ತಿಳಿಸಿದರು.

ಈ ವೇಳೆ “ಕೋವಿಡ್-19 ಲಸಿಕೆ ಪಡೆದು ಜೀವ ಉಳಿಸಿ, ವಿಕಲಚೇತನರೆ ಲಸಿಕೆ ಪಡೆಯಿರಿ, ವಿಕಲಚೇತನರೆ ಲಸಿಕೆ ಪಡೆಯಲು ಹಿಂಜರಿಯಬೇಡಿ, ಕೋವಿಡ್ ಲಸಿಕೆ ಜೀವ ರಕ್ಷಕ ಲಸಿಕೆ ಪಡೆಯಲು ಹಿಂಜರಿಯಬೇಡಿ” ಎಂಬಂತಹ ಘೋಷಣೆಗಳನ್ನು ಕೂಗಿ ಜಾಗೃತಿ ಮೂಡಿಸಿದರು.
ಈ ಸಂದರ್ಭದಲ್ಲಿ ನಗರದ ಮಹಾನಗರಪಾಲಿಕೆಯ ಮಂಜುನಾಥ್, ನಾಗರತ್ನ, ಸೌಮ್ಯ ಹಾಗೂ ಇಲಾಖೆಯ ಸಿಬ್ಬಂದಿಗಳು ಪಾಲ್ಗೊಂಡಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದಾವಣಗೆರೆ | 18 ನೇ ವಾರ್ಡ್ ನಲ್ಲಿ ಕೈ ಅಭ್ಯರ್ಥಿ ಸಮರ್ಥ ಶಾಮನೂರು ಪ್ರಚಾರ

Published

on

ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಸಮರ್ಥ್ ಶಾಮನೂರು ಅವರು ಮಂಗಳವಾರ 18 ನೇ ವಾರ್ಡ್ ವ್ಯಾಪ್ತಿಯಲ್ಲಿ ಅಬ್ಬರ ಪ್ರಚಾರ ನಡೆಸಿದರು.

ನಗರದ ಬಾರ್ ಲೈನ್ ದರ್ಗಕ್ಕೆ ತೆರಳಿ ಚಾದರ ಅರ್ಪಿಸಿದ ಸಮರ್ಥ ಶಾಮನೂರು ಅವರಿಗೆ ಮುಸ್ಲಿಂ ಸಮಾಜದ ಬಾಂಧವರು ಆತ್ಮೀಯವಾಗಿ ಸನ್ಮಾನಿಸಿದರು. ಬಳಿಕ ಅಲ್ಲಿಂದ ಪ್ರಚಾರವನ್ನು ಆರಂಭಿಸಿದ ಅವರು ಎಂ.ಬಿ ಕೇರಿ, ಮಟನ್ ಮಾರ್ಕೇಟ್, ಗಡಿಯಾರ ಕಂಬ, ಸ್ವಾಗೇರ್ ಪೇಟೆ, ಹೊಂಡದ ರಸ್ತೆ, ಕಾಯಿಪೇಟೆಯ ಮನೆ ಮನೆಗೆ ತೆರಳಿ ಮತಯಾಚಿಸಿದರು.

ಕಾಂಗ್ರೆಸ್ ಪಕ್ಷದ ಮುಖಂಡರಾದ ನರಸಿಂಹಪ್ಪ, ರವಿಕುಮಾರ್, ಕಾಶಿನಾಥ್ ಅವರ ಮನೆಗೆ ಅಭ್ಯರ್ಥಿ ಸಮರ್ಥ ಶಾಮನುರು ಅವರು ಭೇಟಿ ನೀಡಿದಾಕ್ಷಣ ಕುಟುಂಬಸ್ಥರು ದಿವಂಗತರಾದ ಡಾ.ಶಾಮನೂರು ಶಿವಶಂಕರಪ್ಪ ಅವರನ್ನು ನೆನೆದು ಭಾವುಕರಾದರು. ಶಾಮನೂರು ಸಮರ್ಥ ಅವರಿಗೆ ದಕ್ಷಿಣ ಕ್ಷೇತ್ರದಲ್ಲಿ ಪ್ರಚಂಡ ಬಹುಮತವನ್ನು ನೀಡಿ ಗೆಲ್ಲಿಸುತ್ತೇವೆ ಎಂದು ಮತದಾರರು ಅಭಿಪ್ರಾಯ ವ್ಯಕ್ತಪಡಿಸಿದರು.

ಸ್ಥಳೀಯ ಮುಖಂಡರಾದ ಚಂದ್ರ ಶೇಖರ್, ಸೋಗಿ ಶಾಂತಕುಮಾರ್, ಪ್ರವೀಣ್ ರಾವ್, ಬಕ್ಕೇಶ್, ಪರಮೇಶ್, ಜಯರಾಜ್, ಹನುಮಂತ್, ರಾಘವೇಂದ್ರ, ಭೀಮಣ್ಣ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಕರ್ನಾಟಕ ಜಾಹೀರಾತು ನೀತಿಗೆ ಸಂಪಾದಕರ ವಿರೋಧ ; ಸಿಎಂಗೆ ಮನವಿ

Published

on

ನೀತಿಯನ್ನು ಪರಿಶೀಲಿಸುವ ಭರವಸೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಸುದ್ದಿದಿನ,ದಾವಣಗೆರೆ: ಕರ್ನಾಟಕ ಜಾಹೀರಾತು ನೀತಿ-2026 ರಲ್ಲಿ ಪತ್ರಿಕೆಗಳಿಗೆ ಮಾರಕವಾದ ನಿಯಮಗಳನ್ನು ಕೈಬಿಡುವಂತೆ ಕೋರಿ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ದಾವಣಗೆರೆ ಜಿಲ್ಲಾ ವರದಿಗಾರರ ಕೂಟದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸೋಮವಾರ ಮಧ್ಯಾಹ್ನ ನಗರದ ಎಂ.ಬಿ.ಎ ಗ್ರೌಂಡ್ ಹೆಲಿಪ್ಯಾಡ್ ನಲ್ಲಿ ಮನವಿ ಸಲ್ಲಿಸಲಾಯಿತು.

ರಾಜ್ಯದಲ್ಲಿ ಜಾರಿಗೆ ತರಲು ಹೊರಟಿರುವ ಕರ್ನಾಟಕ ಜಾಹೀರಾತು ನೀತಿ-2026 ಜಿಲ್ಲಾ‌ ಮಟ್ಟದ ಮತ್ತು ಪ್ರಾದೇಶಿಕ ಮಟ್ಟದ ಪತ್ರಿಕೆಗಳಿಗೆ ಮಾರಕವಾಗಿದ್ದು,ಇದರಿಂದ ಶತಶತಮಾನಗಳಿಂದ ಸಮಾಜದ ಮತ್ತು ಸರ್ಕಾರದ ಕೊಂಡಿಯಾಗಿ ಸೇವೆ ಮಾಡುತ್ತಿರುವ ಪತ್ರಿಕೆಗಳು ಮುಚ್ಚುತ್ತವೆ‌. ಯಾವುದೇ ಕಾರಣಕ್ಕೂ ಪತ್ರಿಕೆಗಳಿಗೆ ಮಾರಕವಾಗುವ ನಿಯಮಗಳನ್ನು ಅಳವಡಿಸದೇ ಪತ್ರಿಕೆಗಳ ಏಳಿಗೆಗೆ ಪೂರಕವಾದ ಅಂಶಗಳನ್ನು ಸೇರಿಸಿ ಕರ್ನಾಟಕ ಜಾಹೀರಾತು ನೀತಿಯನ್ನು ಜಾರಿಗೆ ತರಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ , ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರಿಗೆ ಮನವರಿಕೆ ಮಾಡಿಕೊಡಲಾಯಿತು.

ಸಂಘಗಳ ಮನವಿ ಸ್ವೀಕರಿಸಿದ ಮುಖ್ಯಮಂತ್ರಿಗಳು ಜಾಹೀರಾತು ನೀತಿ ಪರಿಶೀಲಿಸುವ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘದ ರಾಜ್ಯಾಧ್ಯಕ್ಷರಾದ ಎ.ಸಿ.ತಿಪ್ಪೇಸ್ವಾಮಿ, ಜಿಲ್ಲಾ ಘಟಕದ ಅಧ್ಯಕ್ಷರಾದ ಸುರೇಶ್ ಆರ್ ಕುಣೆಬೆಳಕೆರೆ, ಖಜಾಂಜಿ ಶಿವಮೂರ್ತಿ ಟಿ.ಜಿ , ರಾಜ್ಯ ಸಂಘದ ನಾಮನಿರ್ದೇಶನ ಸದಸ್ಯ ಕೆ.ಜೈಮುನಿ ಮತ್ತು
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಅಧ್ಯಕರಾದ ಇ.ಎಂ.ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಬದ್ರಿನಾಥ್, ಖಜಾಂಚಿ ಜೆ.ಎಸ್.ವೀರೇಶ್ ಹಾಗೂ ದಾವಣಗೆರೆ ಜಿಲ್ಲಾ ವರದಿಗಾರರ ಕೂಟದ ಅಧ್ಯಕ್ಷರಾದ ನಾಗರಾಜ ಬಡದಾಳ್ , ಹಿರಿಯ ಪತ್ರಕರ್ತರಾದ ಕೆ.ಏಕಾಂತಮ್ಮ, ಬಿ.ಎನ್.ಮಲ್ಲೇಶ್, ಮಲ್ಲಿಕಾರ್ಜುನ ಕಬ್ಬೂರು, ಆರ್.ಎಸ್.ತಿಪ್ಪೇಸ್ವಾಮಿ, ಕೊಟ್ರೇಶ್ ಅಣಬೂರುಮಠ, ನಿಂಗಪ್ಪ, ಗೋವಿಂದ ರಾಜು, ಫಕೃದ್ದೀನ್, ಆರ್.ರವಿ,ಬಿ.ವಾಸುದೇವ, ರಾಘವೇಂದ್ರ ರಾವ್, ವೇದಮೂರ್ತಿ,ನಿಂಗಪ್ಪ, ಪರಶುರಾಮ, ನಂದಕುಮಾರ್ ಮುಂತಾದವರು ಇದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಹರಿಹರ ನಗರಸಭೆಯು 04 ಸಂಖ್ಯಾತಿರಿಕ್ತ ಪೌರಕಾರ್ಮಿಕರ ಹುದ್ದೆಗಳನ್ನು ವಿಶೇಷ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಪ್ರಸ್ತುತ ಹರಿಹರ ನಗರಸಭೆಯಲ್ಲಿ ಕೆಲಸ ನಿರ್ವಹಿಸುತ್ತಿರುವವರು ಹಾಗೂ ಈ ನಿಯಮ ಜಾರಿಗೆ ಬಂದ ದಿನಾಂಕದಲ್ಲಿಯೂ ಸದರಿ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಮಾರ್ಚ್ 11 ರಿಂದ ಅರ್ಜಿಗಳನ್ನು ಪಡೆದುಕೊಳ್ಳಬಹುದು.

ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಏಪ್ರಿಲ್ 10 ಕಡೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಅರ್ಜಿಗಳನ್ನು ಹರಿಹರ ನಗರಸಭೆ ಕಚೇರಿಯಿಂದ ಮಾತ್ರ ಪಡೆದುಕೊಳ್ಳಬೇಕು. ಹುದ್ದೆಗಳ ವರ್ಗೀಕರಣ, ಷರತ್ತುಗಳು, ವಯೋಮಿತಿ ಮತ್ತು ಅಗತ್ಯ ಅರ್ಹತೆಗಳ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಕಚೇರಿ ಸಮಯದಲ್ಲಿ ಹರಿಹರ ನಗರಸಭೆ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ದಾವಣಗೆರೆಯ ಜಿಲ್ಲಾಧಿಕಾರಿಗಳು ಹಾಗೂ ಆಯ್ಕೆ ಮತ್ತು ನೇರ ನೇಮಕಾತಿ ಪ್ರಾಧಿಕಾರದ ಅಧ್ಯಕ್ಷರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending