Connect with us

ದಿನದ ಸುದ್ದಿ

ಕೋವಿಡ್ ನಿಯಂತ್ರಣಕ್ಕೆ ಪಣತೊಟ್ಟ ಮಹಿಳಾ ಅಧಿಕಾರಿಗಳು

Published

on

ಸುದ್ದಿದಿನ,ಧಾರವಾಡ : ತೊಟ್ಟಿಲು ತೂಗುವ ಕೈ ಜಗತ್ತನ್ನೇ ತೂಗಬಲ್ಲದು. ಮಹಿಳೆ ಅಬಲೆಯಲ್ಲ, ಆಕೆ ಪುರುಷನಷ್ಟೇ ಸಬಲಳು ಎಂಬುದನ್ನು ಜಿಲ್ಲೆಯ ಐವರು ಮಹಿಳಾ ವೈದ್ಯಾಧಿಕಾರಿಗಳು ಸಾಬೀತುಪಡಿಸಿದ್ದಾರೆ. ನಿರ್ಗಮಿತ ಜಿಲ್ಲಾಧಿಕಾರಿ ದೀಪಾ ಚೋಳನ್ ಅವರ ಮಾರ್ಗದರ್ಶನದಲ್ಲಿ ಕಳೆದ ಸುಮಾರು ಮೂರುವರೆ ತಿಂಗಳಿನಿಂದ ಕೋವಿಡ್ ನಿಯಂತ್ರಣಕ್ಕೆ ಸರ್ಕಾರದ ಎಲ್ಲ ಮಾರ್ಗಸೂಚಿಗಳನ್ನು ಜಿಲ್ಲೆಯಲ್ಲಿ ಸಮರ್ಥವಾಗಿ ಅನುಷ್ಠಾನಗೊಳಿಸುತ್ತಿದ್ದಾರೆ.

ಜಗತ್ತನ್ನೇ ತಲ್ಲಣಗೊಳಿಸಿರುವ ಕೊರೊನಾ ವೈರಾಣು ಎಂತಹ ಜಗಜಟ್ಟಿಗಳನ್ನೂ ಕೂಡಾ ನಡುಗಿಸಿದೆ. ಕೊರೊನಾ ವಿರುದ್ಧದ ಈ ಹೋರಾಟದಲ್ಲಿ ಕೊಂಚವೂ ಹಿಂಜರಿಯದೇ ಮುನ್ನುಗ್ಗಿರುವ ಮಹಿಳಾ ಕೊರೊನಾ ಸೇನಾಪಡೆಯೊಂದು ಧಾರವಾಡ ಜಿಲ್ಲೆಯಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದೆ.

ನಿಕಟಪೂರ್ವ ಜಿಲ್ಲಾಧಿಕಾರಿ ದೀಪಾ ಚೋಳನ್ ಅವರ ಸಮರ್ಥ ನಾಯಕತ್ವ ಹಾಗೂ ಪ್ರೋತ್ಸಾಹದೊಂದಿಗೆ ಈ ತಂಡವು ಕೋವಿಡ್ ಸೋಂಕಿತರ ಪತ್ತೆ, ಚಿಕಿತ್ಸೆ, ಕ್ವಾರಂಟೈನ್ ಕೇಂದ್ರಗಳ ನಿರ್ವಹಣೆ, ವೈರಾಲಜಿ ಪ್ರಯೋಗಾಲಯ, ಕೆಪಿಎಂಇ ನೋಂದಾಯಿತ ಆಸ್ಪತ್ರೆಗಳಲ್ಲಿ ವರದಿಯಾಗುವ ತೀವ್ರ ಉಸಿರಾಟದ ತೊಂದರೆ ಹಾಗೂ ನೆಗಡಿ, ಕೆಮ್ಮು ಮತ್ತು ಜ್ವರ ಲಕ್ಷಣಗಳಿರುವ ವ್ಯಕ್ತಿಗಳ ಆರೋಗ್ಯ ತಪಾಸಣೆ ಹಾಗೂ ಕಂಟೈನ್‍ಮೆಂಟ್ ವಲಯಗಳ ಜನರ ಆರೋಗ್ಯ ಸಮೀಕ್ಷೆ ಕಾರ್ಯಗಳನ್ನು ಪ್ರತಿನಿತ್ಯ ಜಾಗರೂಕತೆಯಿಂದ ನಿರ್ವಹಿಸುತ್ತಿದೆ.

ಜಿಲ್ಲಾ ಸರ್ವೇಕ್ಷಣಾಧಿಕಾರಿಯಾಗಿರುವ ಡಾ: ಸುಜಾತಾ ಹಸವೀಮಠ ಅವರು ಇಡೀ ಕೊರೊನಾ ನಿಯಂತ್ರಣದ ಹೋರಾಟದ ಪ್ರಮುಖ ಸೇನಾನಿಯಾಗಿದ್ದಾರೆ. ಕಳೆದ ಜನವರಿಯಿಂದಲೇ ಈ ನಿಟ್ಟಿನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಇವರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಮಾರ್ಗದರ್ಶನದಲ್ಲಿ ಸಾಂಕ್ರಾಮಿಕ ರೋಗಗಳನ್ನು ತಡೆಯುವ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.

ಸಾಂಕ್ರಾಮಿಕ ರೋಗಗಳ ತಡೆ ಕಾಯ್ದೆ 1897 ಹಾಗೂ ಕರ್ನಾಟಕ ಸಾಂಕ್ರಾಮಿಕ ರೋಗಗಳ (ಕೋವಿಡ್) ನಿಯಂತ್ರಣ ಕಾಯ್ದೆಯಡಿ ಸರ್ಕಾರ ಕಾಲಕಾಲಕ್ಕೆ ಹೊರಡಿಸುವ ಎಲ್ಲ ನಿರ್ದೇಶನಗಳನ್ನು ಜಿಲ್ಲೆಯಲ್ಲಿ ಅನುಷ್ಠಾನಗೊಳಿಸುವಲ್ಲಿ ಇವರ ಪಾತ್ರ ಪ್ರಮುಖವಾಗಿದೆ. ಕೋವಿಡ್ ಸೋಂಕಿತರು, ಪ್ರಾಥಮಿಕ ಮತ್ತು ದ್ವಿತೀಯ ಹಂತದ ಸಂಪರ್ಕ ಹೊಂದಿದವರನ್ನು ಗುರುತಿಸಿ ತಪಾಸಣೆ ಮತ್ತು ಚಿಕಿತ್ಸೆಗೆ ಒಳಪಡಿಸುವ ಮಹತ್ವದ ಕಾರ್ಯವನ್ನು ಅವಿರತವಾಗಿ ಹಾಗೂ ಸಮರ್ಥವಾಗಿ ನಿಭಾಯಿಸುತ್ತಿದ್ದಾರೆ.

ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿಯಾಗಿರುವ ಡಾ: ಶಶಿ ಪಾಟೀಲ ಅವರು ಕೋವಿಡ್ ಸೋಂಕಿತರ ಸಂಪರ್ಕ ಹೊಂದಿದವರು, ಹೊರರಾಜ್ಯಗಳಿಂದ ಆಗಮಿಸಿದ ಜನರು ಸೇರಿದಂತೆ ಕ್ವಾರಂಟೈನ್ ಅಗತ್ಯವಿರುವ ವ್ಯಕ್ತಿಗಳನ್ನು ಗುರುತಿಸಿ ಕ್ವಾರಂಟೈನ್ ಕೇಂದ್ರಗಳಲ್ಲಿ ಅವರನ್ನು ಪ್ರತ್ಯೇಕವಾಗಿ ಇರಿಸುವ ಕಾರ್ಯ ಮಾಡುತ್ತಿದ್ದಾರೆ.

ಕ್ವಾರಂಟೈನ್ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುವ ವೈದ್ಯಕೀಯ ಮತ್ತು ಅರೆವೈದ್ಯಕೀಯ ಹಾಗೂ ಸಹಾಯಕ ಸಿಬ್ಬಂದಿಗೆ ತರಬೇತಿ ಕೂಡಾ ನೀಡುತ್ತಿದ್ದಾರೆ. ಇದೀಗ ಹೊಸ ಮಾರ್ಗಸೂಚಿಗಳಂತೆ ಗುರುತಿಸಲಾಗಿರುವ ಕೋವಿಡ್ ಕೇರ್ ಸೆಂಟರ್‍ಗಳಲ್ಲಿ ಅಗತ್ಯ ಸೌಲಭ್ಯ ವೈದ್ಯಕೀಯ ಏರ್ಪಾಡುಗಳನ್ನು ನಿರ್ಮಿಸುವಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.

ಕಿಮ್ಸ್‍ನ ಮೈಕ್ರೋಬಯೋಲಾಜಿ ವಿಭಾಗದ ಮುಖ್ಯಸ್ಥೆಯಾಗಿರುವ ಡಾ: ಆಶಾ ಪಾಟೀಲ ಅವರು ಈ ಭಾಗದಲ್ಲಿ ಮೊದಲ ಕೋವಿಡ್ ಪ್ರಯೋಗಾಲಯ ಸ್ಥಾಪಿಸಲು ವಿಶೇಷ ಮುತುವರ್ಜಿ ವಹಿಸಿ ಕಿಮ್ಸ್‍ನಲ್ಲಿ ಪ್ರಯೋಗಾಲಯ ಸ್ಥಾಪನೆಗೆ ಐಸಿಎಂಆರ್ ಅನುಮೋದನೆ ಪಡೆಯಲು ಶ್ರಮಿಸಿದ್ದಾರೆ. ವೈರಾಲಜಿ ಪ್ರಯೋಗಾಲಯದ ತಾಂತ್ರಿಕ ಸಿದ್ಧತೆ ಹಾಗೂ ಮಾನವ ಸಂಪನ್ಮೂಲ ನಿರ್ವಹಣೆಯಂತಹ ಸವಾಲಿನ ಕಾರ್ಯಗಳನ್ನು ಯಶಸ್ವಿಯಾಗಿ ಮುನ್ನಡೆಸುತ್ತಿದ್ದಾರೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಕುಟುಂಬ ಕಲ್ಯಾಣಾಧಿಕಾರಿಯಾಗಿರುವ ಡಾ: ಶಶಿಕಲಾ ನಿಂಬಣ್ಣವರ ಅವರು ಕೆಪಿಎಂಇ ಅಡಿ ನೋಂದಣಿಯಾಗಿರುವ ಆಸ್ಪತ್ರೆಗಳಲ್ಲಿ ಪ್ರತಿನಿತ್ಯ ವರದಿಯಾಗುವ ತೀವ್ರ ಉಸಿರಾಟದ ತೊಂದರೆ ಮತ್ತು ನೆಗಡಿ, ಕೆಮ್ಮು ಹಾಗೂ ಜ್ವರದ ಲಕ್ಷಣಗಳಿರುವ ವ್ಯಕ್ತಿಗಳ ಪರಿಶೀಲನೆ ಮಾಡಿ ಕೋವಿಡ್ ತಪಾಸಣೆಗೆ ಒಳಪಡಿಸುವ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ.

ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿಯಾಗಿರುವ ಡಾ: ತನುಜಾ ಕೆ.ಎನ್. ಅವರು ಜಿಲ್ಲೆಯ ಕಂಟೈನ್‍ಮೆಂಟ್ ವಲಯಗಳಲ್ಲಿ ವಾಸಿಸುವ ವ್ಯಕ್ತಿಗಳ ಆರೋಗ್ಯ ಸಮೀಕ್ಷೆ ಹಾಗೂ ಜಿಲ್ಲೆಯಾದ್ಯಂತ ಇರುವ ಗರ್ಭಿಣಿಯರು, ಬಾಣಂತಿಯರ, ಮಕ್ಕಳು, ಮಧುಮೇಹ, ರಕ್ತದೊತ್ತಡ, ಕುಷ್ಠರೋಗ, ಕ್ಷಯರೋಗ, ಹೆಚ್‍ಐವಿ ಏಡ್ಸ್, ಕ್ಯಾನ್ಸರ್, ಪಾಶ್ರ್ವವಾಯು ಮತ್ತಿತರ ದುರ್ಬಲ ಆರೋಗ್ಯ ಹೊಂದಿರುವ ಜನರ ಆರೋಗ್ಯ ಸಮೀಕ್ಷೆ ನಡೆಸಿ ಅವರಿಗೆ ಅಗತ್ಯ ಚಿಕಿತ್ಸೆಗಳು ಲಭ್ಯವಾಗುವಂತೆ ಎಚ್ಚರ ವಹಿಸುತ್ತಿದ್ದಾರೆ.

ನಿರ್ಗಮಿತ ಜಿಲ್ಲಾಧಿಕಾರಿ ದೀಪಾ ಚೋಳನ್ ಅವರ ನಾಯಕತ್ವದಲ್ಲಿ ಇದುವರೆಗೆ ಸಮರ್ಥವಾಗಿ ಕರ್ತವ್ಯ ನಿರ್ವಹಿಸಿರುವ ಈ ಮಹಿಳಾ ಕೊರೊನಾ ಸೇನಾನಿಗಳ ತಂಡ ಇದೀಗ ನೂತನ ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ ಅವರ ಮಾರ್ಗದರ್ಶನದಲ್ಲಿ ತಮ್ಮ ಕಾರ್ಯ ಮುಂದುವರೆಸಲು ಉತ್ಸುಕರಾಗಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದಾವಣಗೆರೆ | 18 ನೇ ವಾರ್ಡ್ ನಲ್ಲಿ ಕೈ ಅಭ್ಯರ್ಥಿ ಸಮರ್ಥ ಶಾಮನೂರು ಪ್ರಚಾರ

Published

on

ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಸಮರ್ಥ್ ಶಾಮನೂರು ಅವರು ಮಂಗಳವಾರ 18 ನೇ ವಾರ್ಡ್ ವ್ಯಾಪ್ತಿಯಲ್ಲಿ ಅಬ್ಬರ ಪ್ರಚಾರ ನಡೆಸಿದರು.

ನಗರದ ಬಾರ್ ಲೈನ್ ದರ್ಗಕ್ಕೆ ತೆರಳಿ ಚಾದರ ಅರ್ಪಿಸಿದ ಸಮರ್ಥ ಶಾಮನೂರು ಅವರಿಗೆ ಮುಸ್ಲಿಂ ಸಮಾಜದ ಬಾಂಧವರು ಆತ್ಮೀಯವಾಗಿ ಸನ್ಮಾನಿಸಿದರು. ಬಳಿಕ ಅಲ್ಲಿಂದ ಪ್ರಚಾರವನ್ನು ಆರಂಭಿಸಿದ ಅವರು ಎಂ.ಬಿ ಕೇರಿ, ಮಟನ್ ಮಾರ್ಕೇಟ್, ಗಡಿಯಾರ ಕಂಬ, ಸ್ವಾಗೇರ್ ಪೇಟೆ, ಹೊಂಡದ ರಸ್ತೆ, ಕಾಯಿಪೇಟೆಯ ಮನೆ ಮನೆಗೆ ತೆರಳಿ ಮತಯಾಚಿಸಿದರು.

ಕಾಂಗ್ರೆಸ್ ಪಕ್ಷದ ಮುಖಂಡರಾದ ನರಸಿಂಹಪ್ಪ, ರವಿಕುಮಾರ್, ಕಾಶಿನಾಥ್ ಅವರ ಮನೆಗೆ ಅಭ್ಯರ್ಥಿ ಸಮರ್ಥ ಶಾಮನುರು ಅವರು ಭೇಟಿ ನೀಡಿದಾಕ್ಷಣ ಕುಟುಂಬಸ್ಥರು ದಿವಂಗತರಾದ ಡಾ.ಶಾಮನೂರು ಶಿವಶಂಕರಪ್ಪ ಅವರನ್ನು ನೆನೆದು ಭಾವುಕರಾದರು. ಶಾಮನೂರು ಸಮರ್ಥ ಅವರಿಗೆ ದಕ್ಷಿಣ ಕ್ಷೇತ್ರದಲ್ಲಿ ಪ್ರಚಂಡ ಬಹುಮತವನ್ನು ನೀಡಿ ಗೆಲ್ಲಿಸುತ್ತೇವೆ ಎಂದು ಮತದಾರರು ಅಭಿಪ್ರಾಯ ವ್ಯಕ್ತಪಡಿಸಿದರು.

ಸ್ಥಳೀಯ ಮುಖಂಡರಾದ ಚಂದ್ರ ಶೇಖರ್, ಸೋಗಿ ಶಾಂತಕುಮಾರ್, ಪ್ರವೀಣ್ ರಾವ್, ಬಕ್ಕೇಶ್, ಪರಮೇಶ್, ಜಯರಾಜ್, ಹನುಮಂತ್, ರಾಘವೇಂದ್ರ, ಭೀಮಣ್ಣ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಕರ್ನಾಟಕ ಜಾಹೀರಾತು ನೀತಿಗೆ ಸಂಪಾದಕರ ವಿರೋಧ ; ಸಿಎಂಗೆ ಮನವಿ

Published

on

ನೀತಿಯನ್ನು ಪರಿಶೀಲಿಸುವ ಭರವಸೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಸುದ್ದಿದಿನ,ದಾವಣಗೆರೆ: ಕರ್ನಾಟಕ ಜಾಹೀರಾತು ನೀತಿ-2026 ರಲ್ಲಿ ಪತ್ರಿಕೆಗಳಿಗೆ ಮಾರಕವಾದ ನಿಯಮಗಳನ್ನು ಕೈಬಿಡುವಂತೆ ಕೋರಿ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ದಾವಣಗೆರೆ ಜಿಲ್ಲಾ ವರದಿಗಾರರ ಕೂಟದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸೋಮವಾರ ಮಧ್ಯಾಹ್ನ ನಗರದ ಎಂ.ಬಿ.ಎ ಗ್ರೌಂಡ್ ಹೆಲಿಪ್ಯಾಡ್ ನಲ್ಲಿ ಮನವಿ ಸಲ್ಲಿಸಲಾಯಿತು.

ರಾಜ್ಯದಲ್ಲಿ ಜಾರಿಗೆ ತರಲು ಹೊರಟಿರುವ ಕರ್ನಾಟಕ ಜಾಹೀರಾತು ನೀತಿ-2026 ಜಿಲ್ಲಾ‌ ಮಟ್ಟದ ಮತ್ತು ಪ್ರಾದೇಶಿಕ ಮಟ್ಟದ ಪತ್ರಿಕೆಗಳಿಗೆ ಮಾರಕವಾಗಿದ್ದು,ಇದರಿಂದ ಶತಶತಮಾನಗಳಿಂದ ಸಮಾಜದ ಮತ್ತು ಸರ್ಕಾರದ ಕೊಂಡಿಯಾಗಿ ಸೇವೆ ಮಾಡುತ್ತಿರುವ ಪತ್ರಿಕೆಗಳು ಮುಚ್ಚುತ್ತವೆ‌. ಯಾವುದೇ ಕಾರಣಕ್ಕೂ ಪತ್ರಿಕೆಗಳಿಗೆ ಮಾರಕವಾಗುವ ನಿಯಮಗಳನ್ನು ಅಳವಡಿಸದೇ ಪತ್ರಿಕೆಗಳ ಏಳಿಗೆಗೆ ಪೂರಕವಾದ ಅಂಶಗಳನ್ನು ಸೇರಿಸಿ ಕರ್ನಾಟಕ ಜಾಹೀರಾತು ನೀತಿಯನ್ನು ಜಾರಿಗೆ ತರಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ , ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರಿಗೆ ಮನವರಿಕೆ ಮಾಡಿಕೊಡಲಾಯಿತು.

ಸಂಘಗಳ ಮನವಿ ಸ್ವೀಕರಿಸಿದ ಮುಖ್ಯಮಂತ್ರಿಗಳು ಜಾಹೀರಾತು ನೀತಿ ಪರಿಶೀಲಿಸುವ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘದ ರಾಜ್ಯಾಧ್ಯಕ್ಷರಾದ ಎ.ಸಿ.ತಿಪ್ಪೇಸ್ವಾಮಿ, ಜಿಲ್ಲಾ ಘಟಕದ ಅಧ್ಯಕ್ಷರಾದ ಸುರೇಶ್ ಆರ್ ಕುಣೆಬೆಳಕೆರೆ, ಖಜಾಂಜಿ ಶಿವಮೂರ್ತಿ ಟಿ.ಜಿ , ರಾಜ್ಯ ಸಂಘದ ನಾಮನಿರ್ದೇಶನ ಸದಸ್ಯ ಕೆ.ಜೈಮುನಿ ಮತ್ತು
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಅಧ್ಯಕರಾದ ಇ.ಎಂ.ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಬದ್ರಿನಾಥ್, ಖಜಾಂಚಿ ಜೆ.ಎಸ್.ವೀರೇಶ್ ಹಾಗೂ ದಾವಣಗೆರೆ ಜಿಲ್ಲಾ ವರದಿಗಾರರ ಕೂಟದ ಅಧ್ಯಕ್ಷರಾದ ನಾಗರಾಜ ಬಡದಾಳ್ , ಹಿರಿಯ ಪತ್ರಕರ್ತರಾದ ಕೆ.ಏಕಾಂತಮ್ಮ, ಬಿ.ಎನ್.ಮಲ್ಲೇಶ್, ಮಲ್ಲಿಕಾರ್ಜುನ ಕಬ್ಬೂರು, ಆರ್.ಎಸ್.ತಿಪ್ಪೇಸ್ವಾಮಿ, ಕೊಟ್ರೇಶ್ ಅಣಬೂರುಮಠ, ನಿಂಗಪ್ಪ, ಗೋವಿಂದ ರಾಜು, ಫಕೃದ್ದೀನ್, ಆರ್.ರವಿ,ಬಿ.ವಾಸುದೇವ, ರಾಘವೇಂದ್ರ ರಾವ್, ವೇದಮೂರ್ತಿ,ನಿಂಗಪ್ಪ, ಪರಶುರಾಮ, ನಂದಕುಮಾರ್ ಮುಂತಾದವರು ಇದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಹರಿಹರ ನಗರಸಭೆಯು 04 ಸಂಖ್ಯಾತಿರಿಕ್ತ ಪೌರಕಾರ್ಮಿಕರ ಹುದ್ದೆಗಳನ್ನು ವಿಶೇಷ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಪ್ರಸ್ತುತ ಹರಿಹರ ನಗರಸಭೆಯಲ್ಲಿ ಕೆಲಸ ನಿರ್ವಹಿಸುತ್ತಿರುವವರು ಹಾಗೂ ಈ ನಿಯಮ ಜಾರಿಗೆ ಬಂದ ದಿನಾಂಕದಲ್ಲಿಯೂ ಸದರಿ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಮಾರ್ಚ್ 11 ರಿಂದ ಅರ್ಜಿಗಳನ್ನು ಪಡೆದುಕೊಳ್ಳಬಹುದು.

ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಏಪ್ರಿಲ್ 10 ಕಡೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಅರ್ಜಿಗಳನ್ನು ಹರಿಹರ ನಗರಸಭೆ ಕಚೇರಿಯಿಂದ ಮಾತ್ರ ಪಡೆದುಕೊಳ್ಳಬೇಕು. ಹುದ್ದೆಗಳ ವರ್ಗೀಕರಣ, ಷರತ್ತುಗಳು, ವಯೋಮಿತಿ ಮತ್ತು ಅಗತ್ಯ ಅರ್ಹತೆಗಳ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಕಚೇರಿ ಸಮಯದಲ್ಲಿ ಹರಿಹರ ನಗರಸಭೆ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ದಾವಣಗೆರೆಯ ಜಿಲ್ಲಾಧಿಕಾರಿಗಳು ಹಾಗೂ ಆಯ್ಕೆ ಮತ್ತು ನೇರ ನೇಮಕಾತಿ ಪ್ರಾಧಿಕಾರದ ಅಧ್ಯಕ್ಷರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending