ದಿನದ ಸುದ್ದಿ
ಕೋವಿಡ್ ನಿಯಂತ್ರಣಕ್ಕೆ ಪಣತೊಟ್ಟ ಮಹಿಳಾ ಅಧಿಕಾರಿಗಳು
ಸುದ್ದಿದಿನ,ಧಾರವಾಡ : ತೊಟ್ಟಿಲು ತೂಗುವ ಕೈ ಜಗತ್ತನ್ನೇ ತೂಗಬಲ್ಲದು. ಮಹಿಳೆ ಅಬಲೆಯಲ್ಲ, ಆಕೆ ಪುರುಷನಷ್ಟೇ ಸಬಲಳು ಎಂಬುದನ್ನು ಜಿಲ್ಲೆಯ ಐವರು ಮಹಿಳಾ ವೈದ್ಯಾಧಿಕಾರಿಗಳು ಸಾಬೀತುಪಡಿಸಿದ್ದಾರೆ. ನಿರ್ಗಮಿತ ಜಿಲ್ಲಾಧಿಕಾರಿ ದೀಪಾ ಚೋಳನ್ ಅವರ ಮಾರ್ಗದರ್ಶನದಲ್ಲಿ ಕಳೆದ ಸುಮಾರು ಮೂರುವರೆ ತಿಂಗಳಿನಿಂದ ಕೋವಿಡ್ ನಿಯಂತ್ರಣಕ್ಕೆ ಸರ್ಕಾರದ ಎಲ್ಲ ಮಾರ್ಗಸೂಚಿಗಳನ್ನು ಜಿಲ್ಲೆಯಲ್ಲಿ ಸಮರ್ಥವಾಗಿ ಅನುಷ್ಠಾನಗೊಳಿಸುತ್ತಿದ್ದಾರೆ.
ಜಗತ್ತನ್ನೇ ತಲ್ಲಣಗೊಳಿಸಿರುವ ಕೊರೊನಾ ವೈರಾಣು ಎಂತಹ ಜಗಜಟ್ಟಿಗಳನ್ನೂ ಕೂಡಾ ನಡುಗಿಸಿದೆ. ಕೊರೊನಾ ವಿರುದ್ಧದ ಈ ಹೋರಾಟದಲ್ಲಿ ಕೊಂಚವೂ ಹಿಂಜರಿಯದೇ ಮುನ್ನುಗ್ಗಿರುವ ಮಹಿಳಾ ಕೊರೊನಾ ಸೇನಾಪಡೆಯೊಂದು ಧಾರವಾಡ ಜಿಲ್ಲೆಯಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದೆ.
ನಿಕಟಪೂರ್ವ ಜಿಲ್ಲಾಧಿಕಾರಿ ದೀಪಾ ಚೋಳನ್ ಅವರ ಸಮರ್ಥ ನಾಯಕತ್ವ ಹಾಗೂ ಪ್ರೋತ್ಸಾಹದೊಂದಿಗೆ ಈ ತಂಡವು ಕೋವಿಡ್ ಸೋಂಕಿತರ ಪತ್ತೆ, ಚಿಕಿತ್ಸೆ, ಕ್ವಾರಂಟೈನ್ ಕೇಂದ್ರಗಳ ನಿರ್ವಹಣೆ, ವೈರಾಲಜಿ ಪ್ರಯೋಗಾಲಯ, ಕೆಪಿಎಂಇ ನೋಂದಾಯಿತ ಆಸ್ಪತ್ರೆಗಳಲ್ಲಿ ವರದಿಯಾಗುವ ತೀವ್ರ ಉಸಿರಾಟದ ತೊಂದರೆ ಹಾಗೂ ನೆಗಡಿ, ಕೆಮ್ಮು ಮತ್ತು ಜ್ವರ ಲಕ್ಷಣಗಳಿರುವ ವ್ಯಕ್ತಿಗಳ ಆರೋಗ್ಯ ತಪಾಸಣೆ ಹಾಗೂ ಕಂಟೈನ್ಮೆಂಟ್ ವಲಯಗಳ ಜನರ ಆರೋಗ್ಯ ಸಮೀಕ್ಷೆ ಕಾರ್ಯಗಳನ್ನು ಪ್ರತಿನಿತ್ಯ ಜಾಗರೂಕತೆಯಿಂದ ನಿರ್ವಹಿಸುತ್ತಿದೆ.
ಜಿಲ್ಲಾ ಸರ್ವೇಕ್ಷಣಾಧಿಕಾರಿಯಾಗಿರುವ ಡಾ: ಸುಜಾತಾ ಹಸವೀಮಠ ಅವರು ಇಡೀ ಕೊರೊನಾ ನಿಯಂತ್ರಣದ ಹೋರಾಟದ ಪ್ರಮುಖ ಸೇನಾನಿಯಾಗಿದ್ದಾರೆ. ಕಳೆದ ಜನವರಿಯಿಂದಲೇ ಈ ನಿಟ್ಟಿನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಇವರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಮಾರ್ಗದರ್ಶನದಲ್ಲಿ ಸಾಂಕ್ರಾಮಿಕ ರೋಗಗಳನ್ನು ತಡೆಯುವ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.
ಸಾಂಕ್ರಾಮಿಕ ರೋಗಗಳ ತಡೆ ಕಾಯ್ದೆ 1897 ಹಾಗೂ ಕರ್ನಾಟಕ ಸಾಂಕ್ರಾಮಿಕ ರೋಗಗಳ (ಕೋವಿಡ್) ನಿಯಂತ್ರಣ ಕಾಯ್ದೆಯಡಿ ಸರ್ಕಾರ ಕಾಲಕಾಲಕ್ಕೆ ಹೊರಡಿಸುವ ಎಲ್ಲ ನಿರ್ದೇಶನಗಳನ್ನು ಜಿಲ್ಲೆಯಲ್ಲಿ ಅನುಷ್ಠಾನಗೊಳಿಸುವಲ್ಲಿ ಇವರ ಪಾತ್ರ ಪ್ರಮುಖವಾಗಿದೆ. ಕೋವಿಡ್ ಸೋಂಕಿತರು, ಪ್ರಾಥಮಿಕ ಮತ್ತು ದ್ವಿತೀಯ ಹಂತದ ಸಂಪರ್ಕ ಹೊಂದಿದವರನ್ನು ಗುರುತಿಸಿ ತಪಾಸಣೆ ಮತ್ತು ಚಿಕಿತ್ಸೆಗೆ ಒಳಪಡಿಸುವ ಮಹತ್ವದ ಕಾರ್ಯವನ್ನು ಅವಿರತವಾಗಿ ಹಾಗೂ ಸಮರ್ಥವಾಗಿ ನಿಭಾಯಿಸುತ್ತಿದ್ದಾರೆ.
ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿಯಾಗಿರುವ ಡಾ: ಶಶಿ ಪಾಟೀಲ ಅವರು ಕೋವಿಡ್ ಸೋಂಕಿತರ ಸಂಪರ್ಕ ಹೊಂದಿದವರು, ಹೊರರಾಜ್ಯಗಳಿಂದ ಆಗಮಿಸಿದ ಜನರು ಸೇರಿದಂತೆ ಕ್ವಾರಂಟೈನ್ ಅಗತ್ಯವಿರುವ ವ್ಯಕ್ತಿಗಳನ್ನು ಗುರುತಿಸಿ ಕ್ವಾರಂಟೈನ್ ಕೇಂದ್ರಗಳಲ್ಲಿ ಅವರನ್ನು ಪ್ರತ್ಯೇಕವಾಗಿ ಇರಿಸುವ ಕಾರ್ಯ ಮಾಡುತ್ತಿದ್ದಾರೆ.
ಕ್ವಾರಂಟೈನ್ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುವ ವೈದ್ಯಕೀಯ ಮತ್ತು ಅರೆವೈದ್ಯಕೀಯ ಹಾಗೂ ಸಹಾಯಕ ಸಿಬ್ಬಂದಿಗೆ ತರಬೇತಿ ಕೂಡಾ ನೀಡುತ್ತಿದ್ದಾರೆ. ಇದೀಗ ಹೊಸ ಮಾರ್ಗಸೂಚಿಗಳಂತೆ ಗುರುತಿಸಲಾಗಿರುವ ಕೋವಿಡ್ ಕೇರ್ ಸೆಂಟರ್ಗಳಲ್ಲಿ ಅಗತ್ಯ ಸೌಲಭ್ಯ ವೈದ್ಯಕೀಯ ಏರ್ಪಾಡುಗಳನ್ನು ನಿರ್ಮಿಸುವಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.
ಕಿಮ್ಸ್ನ ಮೈಕ್ರೋಬಯೋಲಾಜಿ ವಿಭಾಗದ ಮುಖ್ಯಸ್ಥೆಯಾಗಿರುವ ಡಾ: ಆಶಾ ಪಾಟೀಲ ಅವರು ಈ ಭಾಗದಲ್ಲಿ ಮೊದಲ ಕೋವಿಡ್ ಪ್ರಯೋಗಾಲಯ ಸ್ಥಾಪಿಸಲು ವಿಶೇಷ ಮುತುವರ್ಜಿ ವಹಿಸಿ ಕಿಮ್ಸ್ನಲ್ಲಿ ಪ್ರಯೋಗಾಲಯ ಸ್ಥಾಪನೆಗೆ ಐಸಿಎಂಆರ್ ಅನುಮೋದನೆ ಪಡೆಯಲು ಶ್ರಮಿಸಿದ್ದಾರೆ. ವೈರಾಲಜಿ ಪ್ರಯೋಗಾಲಯದ ತಾಂತ್ರಿಕ ಸಿದ್ಧತೆ ಹಾಗೂ ಮಾನವ ಸಂಪನ್ಮೂಲ ನಿರ್ವಹಣೆಯಂತಹ ಸವಾಲಿನ ಕಾರ್ಯಗಳನ್ನು ಯಶಸ್ವಿಯಾಗಿ ಮುನ್ನಡೆಸುತ್ತಿದ್ದಾರೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಕುಟುಂಬ ಕಲ್ಯಾಣಾಧಿಕಾರಿಯಾಗಿರುವ ಡಾ: ಶಶಿಕಲಾ ನಿಂಬಣ್ಣವರ ಅವರು ಕೆಪಿಎಂಇ ಅಡಿ ನೋಂದಣಿಯಾಗಿರುವ ಆಸ್ಪತ್ರೆಗಳಲ್ಲಿ ಪ್ರತಿನಿತ್ಯ ವರದಿಯಾಗುವ ತೀವ್ರ ಉಸಿರಾಟದ ತೊಂದರೆ ಮತ್ತು ನೆಗಡಿ, ಕೆಮ್ಮು ಹಾಗೂ ಜ್ವರದ ಲಕ್ಷಣಗಳಿರುವ ವ್ಯಕ್ತಿಗಳ ಪರಿಶೀಲನೆ ಮಾಡಿ ಕೋವಿಡ್ ತಪಾಸಣೆಗೆ ಒಳಪಡಿಸುವ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ.
ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿಯಾಗಿರುವ ಡಾ: ತನುಜಾ ಕೆ.ಎನ್. ಅವರು ಜಿಲ್ಲೆಯ ಕಂಟೈನ್ಮೆಂಟ್ ವಲಯಗಳಲ್ಲಿ ವಾಸಿಸುವ ವ್ಯಕ್ತಿಗಳ ಆರೋಗ್ಯ ಸಮೀಕ್ಷೆ ಹಾಗೂ ಜಿಲ್ಲೆಯಾದ್ಯಂತ ಇರುವ ಗರ್ಭಿಣಿಯರು, ಬಾಣಂತಿಯರ, ಮಕ್ಕಳು, ಮಧುಮೇಹ, ರಕ್ತದೊತ್ತಡ, ಕುಷ್ಠರೋಗ, ಕ್ಷಯರೋಗ, ಹೆಚ್ಐವಿ ಏಡ್ಸ್, ಕ್ಯಾನ್ಸರ್, ಪಾಶ್ರ್ವವಾಯು ಮತ್ತಿತರ ದುರ್ಬಲ ಆರೋಗ್ಯ ಹೊಂದಿರುವ ಜನರ ಆರೋಗ್ಯ ಸಮೀಕ್ಷೆ ನಡೆಸಿ ಅವರಿಗೆ ಅಗತ್ಯ ಚಿಕಿತ್ಸೆಗಳು ಲಭ್ಯವಾಗುವಂತೆ ಎಚ್ಚರ ವಹಿಸುತ್ತಿದ್ದಾರೆ.
ನಿರ್ಗಮಿತ ಜಿಲ್ಲಾಧಿಕಾರಿ ದೀಪಾ ಚೋಳನ್ ಅವರ ನಾಯಕತ್ವದಲ್ಲಿ ಇದುವರೆಗೆ ಸಮರ್ಥವಾಗಿ ಕರ್ತವ್ಯ ನಿರ್ವಹಿಸಿರುವ ಈ ಮಹಿಳಾ ಕೊರೊನಾ ಸೇನಾನಿಗಳ ತಂಡ ಇದೀಗ ನೂತನ ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ ಅವರ ಮಾರ್ಗದರ್ಶನದಲ್ಲಿ ತಮ್ಮ ಕಾರ್ಯ ಮುಂದುವರೆಸಲು ಉತ್ಸುಕರಾಗಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಾವಿನಲ್ಲೂ ಒಂದಾದ ಪ್ರೇಮಿಗಳು: ಪ್ರೇಮಿಯ ಪಕ್ಕದಲ್ಲೇ ಪ್ರೇಯಸಿಯ ಅಂತ್ಯಸಂಸ್ಕಾರ!
ಸುದ್ದಿದಿನ,ಕುಂಬಳೆ: ಪ್ರೀತಿ ಎನ್ನುವುದು ಸಾವಿನ ನಂತರವೂ ಶಾಶ್ವತ ಎಂಬುದಕ್ಕೆ ಕೇರಳದ ಕಾಸರಗೋಡಿನಲ್ಲಿ ನಡೆದ ಈ ಘಟನೆ ಸಾಕ್ಷಿಯಾಗಿದೆ. ನಿಶ್ಚಿತಾರ್ಥವಾಗಿದ್ದ ಯುವಕ ಮೃತಪಟ್ಟ ಬೆನ್ನಲ್ಲೇ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದ ಯುವತಿಯ ಅಂತ್ಯಸಂಸ್ಕಾರವನ್ನು ಆಕೆಯ ಇಚ್ಛೆಯಂತೆ ಯುವಕನ ಸಮಾಧಿಯ ಪಕ್ಕದಲ್ಲೇ ನೆರವೇರಿಸಲಾಗಿದೆ.
ನಡೆದಿದ್ದೇನು?
ಕಿದೂರು ಕುಂಟಂಗೇರಡ್ಕದ ಪ್ರಫುಲ್ಲ (26) ಮತ್ತು ತಮಿಳುನಾಡು ನಿವಾಸಿಯಾದ ಬ್ಯಾಂಕ್ ನೌಕರ ಮಣಿ ಎಂಬವರಿಗೆ ನಾಲ್ಕು ತಿಂಗಳ ಹಿಂದೆ ಅದ್ಧೂರಿಯಾಗಿ ಮದುವೆ ನಿಶ್ಚಿತಾರ್ಥ ನಡೆದಿತ್ತು. ಇನ್ನೇನು ದಾಂಪತ್ಯ ಜೀವನಕ್ಕೆ ಕಾಲಿಡಬೇಕು ಎನ್ನುವಷ್ಟರಲ್ಲಿ, ಒಂದು ತಿಂಗಳ ಹಿಂದೆ ಸಂಭವಿಸಿದ ಬೈಕ್ ಅಪಘಾತದಲ್ಲಿ ಮಣಿ ಮೃತಪಟ್ಟಿದ್ದರು.
ಡೆತ್ ನೋಟ್ನಲ್ಲಿತ್ತು ಕೊನೆಯ ಆಸೆ
ತನ್ನ ಭಾವಿ ಪತಿಯ ಅಗಲಿಕೆಯಿಂದ ತೀವ್ರವಾಗಿ ನೊಂದಿದ್ದ ಪ್ರಫುಲ್ಲ, ಕಳೆದ ಭಾನುವಾರ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಸಾವಿಗೂ ಮುನ್ನ ಆಕೆ ಬರೆದಿದ್ದ ಡೆತ್ ನೋಟ್ ಎಲ್ಲರ ಕಣ್ಣಾಲಿಗಳನ್ನು ಒದ್ದೆ ಮಾಡಿದೆ. “ನನ್ನ ಮೃತದೇಹವನ್ನು ಮಣಿಯ ಸಮಾಧಿಯ ಸಮೀಪದಲ್ಲೇ ಅಂತ್ಯಸಂಸ್ಕಾರ ಮಾಡಬೇಕು” ಎಂದು ಆಕೆ ತನ್ನ ಕೊನೆಯ ಆಸೆಯನ್ನು ಬರೆದಿಟ್ಟಿದ್ದರು.
ತಮಿಳುನಾಡಿನಲ್ಲಿ ಅಂತ್ಯಕ್ರಿಯೆ
ಯುವತಿಯ ಆಸೆಯಂತೆ ಉಭಯ ಕುಟುಂಬದವರು ಮಾತುಕತೆ ನಡೆಸಿದರು. ಅದರಂತೆ ನಿನ್ನೆ ಕಾಸರಗೋಡಿನಿಂದ ಪ್ರಫುಲ್ಲರ ಮೃತದೇಹವನ್ನು ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯ ವಳ್ಳಿಯೂರು ಎಂಬಲ್ಲಿಗೆ ಕೊಂಡೊಯ್ಯಲಾಯಿತು. ಅಲ್ಲಿ ಮಣಿಯ ಸಮಾಧಿಯ ಪಕ್ಕದಲ್ಲೇ ಪ್ರಫುಲ್ಲರ ಅಂತ್ಯಸಂಸ್ಕಾರವನ್ನು ನೆರವೇರಿಸುವ ಮೂಲಕ ಪ್ರೇಮಿಗಳಿಬ್ಬರನ್ನು ಸಾವಿನಲ್ಲೂ ಒಂದಾಗಿಸಲಾಯಿತು.
ಅಂತ್ಯಸಂಸ್ಕಾರದ ವೇಳೆ ಎರಡೂ ಕುಟುಂಬದ ಸದಸ್ಯರು ಉಪಸ್ಥಿತರಿದ್ದು, ಮರುಗುವ ಪ್ರೇಮಕಥೆಗೆ ಕಂಬನಿಯ ವಿದಾಯ ಹೇಳಿದರು. ಈ ವಿಡಿಯೋ ಮತ್ತು ಸುದ್ದಿ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದ್ದು, ನೆಟ್ಟಿಗರು ಈ ಜೋಡಿಯ ಆತ್ಮಕ್ಕೆ ಶಾಂತಿ ಕೋರುತ್ತಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನ ಡಿಪ್ಲೋಮಾ ಕೋರ್ಸ್; ಪ್ರವೇಶಾತಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ: 2026-27ನೇ ಶೈಕ್ಷಣಿಕ ಸಾಲಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿನ ಮೂರು ವರ್ಷಗಳ ಡಿಪ್ಲೋಮಾ (ಡಿ.ಹೆಚ್.ಟಿ.ಟಿ) ಹಾಗೂ ಎರಡನೇ ವರ್ಷದ ನೇರ ಪ್ರವೇಶಕ್ಕೆ (Lateral Entry) ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ 2026 ರ ಜುಲೈ 01ಕ್ಕೆ ಅನ್ವಯಿಸುವಂತೆ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 23 ವರ್ಷ ಹಾಗೂ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 25 ವರ್ಷ ಮೀರಿರಬಾರದು. ಒಟ್ಟು 39 ಅಭ್ಯರ್ಥಿಗಳನ್ನು (ಪುರುಷ ಮತ್ತು ಮಹಿಳಾ) ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಪ್ರತಿಯೊಬ್ಬ ವಿದ್ಯಾರ್ಥಿಗೆ ಪ್ರತಿ ತಿಂಗಳು ರೂ. 2,500/- ಗಳ ಶಿಷ್ಯವೇತನ ನೀಡಲಾಗುವುದು., ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲಿಷ್ ಅನ್ನು ಒಂದು ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರಬೇಕು.
ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಡಿಪ್ಲೋಮಾ ಕೋರ್ಸ್ಗೆ ನೇರ ಪ್ರವೇಶಕ್ಕೆ https://khtigadag.ac.in/
ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿಗಳಿಗಾಗಿ ಉಪ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಪಂಚಾಯತ್, ಕಾಲೇಜು ರಸ್ತೆ, ನಿಟ್ಟುವಳ್ಳಿ, ದಾವಣಗೆರೆ ಅಥವಾ ದೂರವಾಣಿ ಸಂಖ್ಯೆ: 08192-262362 ಸಂಪರ್ಕಿಸುವಂತೆ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದಿನದ ಸುದ್ದಿ
ದಾವಣಗೆರೆ| ಅಪರಿಚಿತರು ನೀಡಿದ ಟೆಲಿಗ್ರಾಮ್ ಲಿಂಕ್ ಕ್ಲಿಕ್ ಮಾಡಿ 14 ಲಕ್ಷ ಕಳೆದುಕೊಂಡ ಉಪನ್ಯಾಸಕ
ಸುದ್ದಿದಿನ,ದಾವಣಗೆರೆ: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚು ಲಾಭ ಬರುತ್ತದೆ ಎಂಬುದಾಗಿ ಉಪನ್ಯಾಸಕರೊಬ್ಬರಿಗೆ ಆಮಿಷ ತೋರಿಸಿದ ದುಷ್ಕರ್ಮಿಗಳು 14 ಲಕ್ಷ ರೂಪಾಯಿ ವಂಚಿಸಿರುವ ಘಟನೆ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.
ದಾವಣಗೆರೆಯ ಭೂಮಿಕಾ ನಗರದ ನಿವಾಸಿಯಾಗಿರುವ 52 ವರ್ಷದ ಸರ್ಕಾರಿ ಕಾಲೇಜಿನ ಉಪನ್ಯಾಸಕ ಹಣ ಕಳೆದುಕೊಂಡಿದ್ದಾರೆ.
ಉಪನ್ಯಾಸಕರು ಮೊದಲಿಗೆ ಟೆಲಿಗ್ರಾಂ ಮೂಲಕ ಲಿಂಕ್ ಕ್ಲಿಕ್ ಮಾಡಿದ್ದಾರೆ. ಅಲ್ಲಿ ವಂಚಕರು ಹೇಳಿದಂತೆ ಹಲವು ಲಿಂಕ್ಗಳನ್ನು ಕ್ಲಿಕ್ ಮಾಡುತ್ತಾ ಹೋಗಿದ್ದು, ಹಂತಹಂತವಾಗಿ ಹಣ ಕಳೆದುಕೊಂಡಿದ್ದಾರೆ.
ಲಾಭದ ನಿರೀಕ್ಷೆಯಲ್ಲಿದ್ದ ಉಪನ್ಯಾಸಕರಿಗೆ ಲಾಭ ಹೋಗಲಿ, ಅಸಲೂ ಬಾರದ ಕಾರಣ ಅನುಮಾನಗೊಂಡು ತಾನು ಹಣ ಕಳೆದುಕೊಂಡಿರುವುದು ದೃಢಪಟ್ಟಿದೆ. ನಂತರ ಸೈಬರ್ ಠಾಣೆಗೆ ತೆರಳಿ ಪ್ರಕರಣ ದಾಖಲಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ2 days ago2.5 ಕೋಟಿ ಖರೀದಿಯಲ್ಲಿ ಅವ್ಯವಹಾರ ; ಆಯುಕ್ತೆ ಮಂಜುಶ್ರೀ ಸೇರಿ 6 ಅಧಿಕಾರಿಗಳ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ6 days agoದಾವಣಗೆರೆ | ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಬೆಂಕಿ ರಹಿತ ಕುಕಿಂಗ್ ಕಾರ್ಯಕ್ರಮ
-
ದಿನದ ಸುದ್ದಿ6 days agoಮಕ್ಕಳ ಆಧಾರ್ ಬಯೋಮೆಟ್ರಿಕ್ ನವೀಕರಣಕ್ಕೆ ಉಚಿತ ಅವಕಾಶ : ಕೂಡಲೇ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ
-
ದಿನದ ಸುದ್ದಿ2 days agoದಾವಣಗೆರೆ | ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಸಮಾರೋಪ ಸಮಾರಂಭ
-
ದಿನದ ಸುದ್ದಿ6 days agoಸಂಶೋಧಕರಿಂದ ಪಶ್ಚಿಮ ಘಟ್ಟಗಳಲ್ಲಿ ಮೂರು ಅಣಬೆಯ ಹೊಸ ಶಿಲೀಂಧ್ರ ಜಾತಿಗಳ ಪತ್ತೆ
-
ಕ್ರೀಡೆ6 days agoಹಿರಿಯ ಕ್ರಿಕೆಟ್ ಪಟು ಎನ್ಆರ್ಎಚ್ ರಮೇಶ್ ನಿಧನ
-
ಅಂಕಣ1 day agoಪ್ರಜಾಪ್ರಭುತ್ವ: ಸಮಾನತೆ, ಸಾಮಾಜಿಕ ನ್ಯಾಯ ಮತ್ತು ನೈತಿಕ ಹೊಣೆಗಾರಿಕೆ
-
ದಿನದ ಸುದ್ದಿ1 day agoದಾವಣಗೆರೆ| ಅಪರಿಚಿತರು ನೀಡಿದ ಟೆಲಿಗ್ರಾಮ್ ಲಿಂಕ್ ಕ್ಲಿಕ್ ಮಾಡಿ 14 ಲಕ್ಷ ಕಳೆದುಕೊಂಡ ಉಪನ್ಯಾಸಕ

