Connect with us

ದಿನದ ಸುದ್ದಿ

ದಾವಣಗೆರೆ | ಜಿಲ್ಲೆಯ 25 ಗ್ರಾಮಗಳು ನಿಯಂತ್ರಿತ ವಲಯ : ಜಿಲ್ಲಾಧಿಕಾರಿ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ದಾವಣಗೆರೆ : ಕೋವಿಡ್-19 ಸಾಂಕ್ರಮಿಕ ರೋಗದ 2ನೇ ಅಲೆ ನಿಯಂತ್ರಣಕ್ಕಾಗಿ ದಾವಣಗೆರೆ ಜಿಲ್ಲೆಯಲ್ಲಿನ ಗ್ರಾಮಾಂತರ ಪ್ರದೇಶಗಳಲ್ಲಿ ಹತ್ತಕ್ಕಿಂತ ಹೆಚ್ಚು ಕೋವಿಡ್ ಸೋಂಕಿತರಿರುವ ವಿವಿಧ ಗ್ರಾಮಗಳಲ್ಲಿ ಕೋವಿಡ್ ಸೋಂಕು ಹರಡುವ ಸರಪಳಿಯನ್ನು ತಡೆಗಟಲು ಈ ಕೆಳಕಂಡ ಗ್ರಾಮಗಳನ್ನು ನಿಯಂತ್ರಿತ ವಲಯಗಳೆಂದು ಘೋಷಿಸಿ ವಿಪತ್ತು ನಿರ್ವಹಣ ಕಾಯ್ದೆ 2005 ರ ಕಲಂ 26,33,34 ರಡಿಯಲ್ಲಿ ಪ್ರದತ್ತವಾಗಿರುವ ಅಧಿಕಾರವನ್ನು ಚಲಾಯಿಸಿ ಈ ಕೆಳಕಂಡ ಗ್ರಾಮಗಳನ್ನು ನಿಯಂತ್ರಿತ ವಲಯ ಎಂದು ಘೋಷಿಸಿ ಜಿಲ್ಲಾಧಿಕಾರಿ ಮಹಾಾಂತೇಶ್ ಬೀಳಗಿ ಆದೇಶಿಸಿರುತ್ತಾರೆ.

ದಾವಣಗೆರೆ ತಾಲ್ಲೂಕಿನ ಅಣಬೇರು, ಕುಕ್ಕುವಾಡ, ಕೈದಾಳೆ, ಕುರ್ಕಿ, ತುರ್ಚಘಟ್ಟ, ಬೇತೂರು, ಕಾಶೀಪುರ, ಮಳಲಕೆರೆ ಗ್ರಾಮಗಳು, ಹರಿಹರ ತಾಲ್ಲೂಕಿನ ಗುತ್ತೂರು, ಕೆ.ಬೇವಿನಹಳ್ಳಿ, ನಂದಿತಾವರೆ, ಭಾನುವಳ್ಳಿ, ಹೊಳೆಸಿರಿಗೆರೆ, ಹಾಲಿವಾಣ ಗ್ರಾಮಗಳು, ಹೊನ್ನಾಳಿ ತಾಲ್ಲೂಕಿನ ಕುಳಗಟ್ಟೆ, ಹನುಮನಹಳ್ಳಿ, ಕೂಲಂಬಿ, ಗೊಲ್ಲರಹಳ್ಳಿ, ಐನೂರು ಗ್ರಾಮಗಳು, ನ್ಯಾಮತಿ ತಾಲ್ಲೂಕಿನ ದಾನಿಹಳ್ಳಿ, ಕುಂಕೊವ, ಫಲವನಹಳ್ಳಿ, ಸುರಹೊನ್ನೆ ಗ್ರಾಮಗಳು, ಚನ್ನಗಿರಿ ತಾಲ್ಲೂಕಿನ ಸಿದ್ದನಮಠ ಗ್ರಾಮ ಹಾಗೂ ಜಗಳೂರು ತಾಲ್ಲೂಕಿನ ಹೊಸಕೆರೆ ಗ್ರಾಮಗಳಲ್ಲಿ ಹತ್ತಕ್ಕಿಂತ ಹೆಚ್ಚು ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಈ ಗ್ರಾಮಗಳನ್ನು ನಿಯಂತ್ರಿತ ವಲಯಗಳೆಂದು ಘೋಷಿಸಲಾಗಿದೆ.

ಮೇಲ್ಕಂಡ ನಿಯಂತ್ರಣ ವಲಯದ ಗ್ರಾಮಗಳಲ್ಲಿ ಘಟನ ಕಮ್ಯಾಂಡರ್ ಆಗಿ ಸಂಬಂಧಿತ ಗ್ರಾಮ ಪಂಚಾಯತಿಯ ಅಭಿವೃದ್ಧಿ ಅಧಿಕಾರಿಗಳನ್ನು ನೇಮಿಸಲಾಗಿರುತ್ತದೆ. ಸದರಿ ಗ್ರಾಮಗಳಲ್ಲಿ ಅನಾವಶ್ಯಕವಾಗಿ ಜನರು ಓಡಾಡುವುದು ಹಾಗೂ ಸದರಿ ಗ್ರಾಮಗಳಲ್ಲಿ ಹೊರಗಿನ ಜನರು ಓಡಾಡುವುದು ನಿಷೇಧಿಸಲಾಗಿದ್ದು, ಮಾರ್ಗಸೂಚಿಗಳಲ್ಲಿ ವಿಧಿಸಿರುವ ನಿಬಂಧನೆಗಳನ್ನು ಸಾರ್ವಜನಿಕರು ಕಟ್ಟುನಿಟ್ಟಾಗಿ ಪಾಲಿಸಿ ಅಗತ್ಯ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಆದೇಶಿಸಿರುತ್ತಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದಾವಣಗೆರೆ ವಿಶ್ವವಿದ್ಯಾಲಯ | ಗುಣಮಟ್ಟದ ಸಂಶೋಧನೆ ಶೈಕ್ಷಣಿಕ ಪ್ರಗತಿ – ಜಾಗತಿಕ ಮಾನ್ಯತೆಯ ಮೂಲಾಧಾರ : ಕುಲಪತಿ ಪ್ರೊ. ಬಿ. ಇ. ರಂಗಸ್ವಾಮಿ

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆ ವಿಶ್ವವಿದ್ಯಾಲಯದ ಶಿವಗಂಗೋತ್ರಿಯ ನೂತನ ವಿಜ್ಞಾನ ಸಭಾಂಗಣದಲ್ಲಿ ಕಂಪ್ಯೂಟರ್ ಅಪ್ಲಿಕೇಷನ್ಸ್ (ಎಮ್.ಸಿ.ಎ) ಹಾಗೂ ಕಂಪ್ಯೂಟರ್ ಸೈನ್ಸ್ (ಎಮ್.ಎಸ್ಸಿ) ವಿಭಾಗಗಳ ಸಂಯುಕ್ತಾಶ್ರಯದಲ್ಲಿ “ಸಂಶೋಧನಾ ಸಮಸ್ಯೆಯನ್ನು ಗುರುತಿಸುವ ವಿವಿಧ ವಿಧಾನಗಳು, ಹೊಸ ಸಂಶೋಧನಾ ಕಲ್ಪನೆಗಳ ಸೃಷ್ಟಿ ಹಾಗೂ ಟೈಯರ್-1 ಸಂಶೋಧನಾ ಲೇಖನಗಳ ಬರಹದ ಪ್ರಮುಖ ಅಂಶಗಳು” ಎಂಬ ವಿಷಯದ ಕುರಿತು ಒಂದು ದಿನದ ರಾಷ್ಟ್ರೀಯ ಮಟ್ಟದ ಕಾರ್ಯಾಗಾರ ಯಶಸ್ವಿಯಾಗಿ ನಡೆಯಿತು.

ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ದಾವಣಗೆರೆ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ. ಇ. ರಂಗಸ್ವಾಮಿ, ಗುಣಮಟ್ಟದ ಸಂಶೋಧನೆಯೇ ವಿಶ್ವವಿದ್ಯಾಲಯಗಳ ಶೈಕ್ಷಣಿಕ ಪ್ರಗತಿ ಮತ್ತು ಜಾಗತಿಕ ಮಾನ್ಯತೆಯ ಮೂಲಾಧಾರವಾಗಿದೆ ಎಂದು ಹೇಳಿದರು.

ಸಂಶೋಧನೆ ಕೇವಲ ಪದವಿ ಪಡೆಯುವ ಪ್ರಕ್ರಿಯೆಯಾಗಬಾರದು, ಅದು ಸಮಾಜದ ಸಮಸ್ಯೆಗಳಿಗೆ ಪರಿಹಾರ ನೀಡುವ ದಿಕ್ಕಿನಲ್ಲಿ ಸಾಗಬೇಕು. ಅಂತರರಾಷ್ಟ್ರೀಯ ಮಟ್ಟದಲ್ಲಿ ಗುಣಮಟ್ಟದ ಪ್ರಕಟಣೆಗಳು ವಿಶ್ವವಿದ್ಯಾಲಯದ ಸಂಶೋಧನಾ ಸಾಮರ್ಥ್ಯವನ್ನು ಪ್ರತಿಬಿಂಬಿಸುತ್ತವೆ ಎಂದು ಅಭಿಪ್ರಾಯಪಟ್ಟರು.

ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಯು ಕೆ ಮಾಂಚೆಸ್ಟರ್‌ನ ‘ಯೂನಿವರ್ಸಿಟಿ ಆಫ್ ಸ್ಯಾಲ್‌ಫೋರ್ಡ್’ನ ಕಂಪ್ಯೂಟರ್ ಸೈನ್ಸ್ ಪ್ರಾಧ್ಯಾಪಕ ಡಾ. ಶಿವಕುಮಾರ ಪಿ. ಮಾತನಾಡಿ, ಸಂಶೋಧನಾ ಸಮಸ್ಯೆ ಗುರುತಿಸುವಿಕೆ, ಸಂಶೋಧನಾ ಅಂತರ (Research Gap) ಪತ್ತೆ, ಸಾಹಿತ್ಯ ಸಮೀಕ್ಷೆ, ಪ್ರಯೋಗಾತ್ಮಕ ವಿನ್ಯಾಸ (Experimental Design), ಟೈಯರ್-1 ಜರ್ನಲ್ ಲೇಖನ ಬರಹ, ಪ್ರಕಟಣಾ ನೈತಿಕತೆ ಹಾಗೂ ವಿಮರ್ಶಕರ ಅಭಿಪ್ರಾಯಗಳಿಗೆ ಪರಿಣಾಮಕಾರಿಯಾಗಿ ಪ್ರತಿಕ್ರಿಯಿಸುವ ವಿಧಾನಗಳ ಕುರಿತು ಸಮಗ್ರ ಮಾಹಿತಿ ನೀಡಿದರು.

“ಒಂದು ಉತ್ತಮ ಸಂಶೋಧನಾ ಲೇಖನದ ಯಶಸ್ಸು ಅದರ ಹೊಸತನ, ವೈಜ್ಞಾನಿಕ ವಿಧಾನ ಮತ್ತು ಸ್ಪಷ್ಟವಾದ ಪ್ರಸ್ತುತೀಕರಣದಲ್ಲಿ ಅಡಗಿದೆ. ಸಂಶೋಧಕರು ಗುಣಮಟ್ಟದ ಸಮಸ್ಯೆಗಳನ್ನು ಆಯ್ಕೆ ಮಾಡಿಕೊಂಡು ಅಂತರರಾಷ್ಟ್ರೀಯ ಮಟ್ಟದ ಪ್ರಕಟಣೆಗೆ ಸಿದ್ಧರಾಗಬೇಕು,” ಎಂದು ಅವರು ಕರೆ ನೀಡಿದರು.

ಕಾರ್ಯಾಗಾರದಲ್ಲಿ 250ಕ್ಕೂ ಹೆಚ್ಚು ಸಂಶೋಧನಾ ವಿದ್ಯಾರ್ಥಿಗಳು, ಸ್ನಾತಕೋತ್ತರ ವಿದ್ಯಾರ್ಥಿಗಳು ಹಾಗೂ ವಿವಿಧ ವಿಭಾಗಗಳ ಅಧ್ಯಾಪಕರು ಭಾಗವಹಿಸಿದ್ದರು. ಪೋಸ್ಟರ್ ಪ್ರಸೆಂಟೇಷನ್‌ಗಳು, ಸಂವಾದಾತ್ಮಕ ಚರ್ಚೆಗಳು ಮತ್ತು ಸಂಶೋಧನಾ ಲೇಖನ ಬರಹದ ಪ್ರಾಯೋಗಿಕ ಮಾರ್ಗದರ್ಶನ ಕಾರ್ಯಕ್ರಮದ ವಿಶೇಷ ಆಕರ್ಷಣೆಯಾಗಿತ್ತು. ಭವಿಷ್ಯದಲ್ಲೂ ಇಂತಹ ಕಾರ್ಯಾಗಾರಗಳ ಸರಣಿಯನ್ನು ಆಯೋಜಿಸಲು ವಿಶ್ವವಿದ್ಯಾಲಯ ನಿರ್ಧರಿಸಿದೆ. ಭಾಗವಹಿಸಿದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಕುಲಸಚಿವ ಶ್ರೀ ಎಸ್. ಬಿ. ಗಂಟಿ, ಪರೀಕ್ಷಾಂಗ ಕುಲಸಚಿವ ಡಾ. ಸಿ. ಕೆ. ರಮೇಶ್, ಡಾ. ಬಸವಣ್ಣ ಎಮ್. ಅಧ್ಯಕ್ಷರು, ಎಮ್.ಸಿ.ಎ ವಿಭಾಗ, ಡಾ. ಚಂದ್ರಕಾಂತ ಎನ್. ಅಧ್ಯಕ್ಷರು, ಕಂಪ್ಯೂಟರ್ ಸೈನ್ಸ್ ವಿಭಾಗ, ಹಣಕಾಸು ಅಧಿಕಾರಿ ಡಾ. ಆರ್. ಶಶಿಧರ್ ಹಾಗೂ ವಿವಿಧ ವಿಭಾಗಗಳ ಅಧ್ಯಕ್ಷರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ ಸಚಿವರಾಗಿ ಆಯ್ಕೆ: ದಾವಣಗೆರೆಯಲ್ಲಿ ಸಂಭ್ರಮ ಆಚರಣೆ

Published

on

ಸುದ್ದಿದಿನ,ದಾವಣಗೆರೆ: ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಮಾಯಕೊಂಡ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಎಸ್. ಬಸವಂತಪ್ಪ ಅವರಿಗೆ ಸಚಿವ ಸ್ಥಾನ ದೊರೆತಿರುವುದು ದಾವಣಗೆರೆ ಜಿಲ್ಲೆಯ ರಾಜಕೀಯ ಇತಿಹಾಸದಲ್ಲಿ ಮಹತ್ವದ ಬೆಳವಣಿಗೆಯಾಗಿ ಪರಿಣಮಿಸಿದೆ. ಹಲವು ವರ್ಷಗಳಿಂದ ಪಕ್ಷದ ಸಂಘಟನೆಗೆ ಸಲ್ಲಿಸಿರುವ ಸೇವೆ, ಕ್ಷೇತ್ರದ ಅಭಿವೃದ್ಧಿಗೆ ನೀಡಿರುವ ಆದ್ಯತೆ ಹಾಗೂ ಜನಸಾಮಾನ್ಯರೊಂದಿಗೆ ಹೊಂದಿರುವ ನಿಕಟ ಸಂಪರ್ಕವನ್ನು ಪರಿಗಣಿಸಿ ಅವರಿಗೆ ಸಚಿವ ಸ್ಥಾನ ನೀಡಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಸಚಿವರಾಗಿ ಆಯ್ಕೆಯಾದ ಸುದ್ದಿ ಪ್ರಕಟವಾಗುತ್ತಿದ್ದಂತೆಯೇ ಮಾಯಕೊಂಡ ಕ್ಷೇತ್ರ ಸೇರಿದಂತೆ ದಾವಣಗೆರೆ ಜಿಲ್ಲೆಯ ವಿವಿಧ ಭಾಗಗಳಲ್ಲಿ ಸಂಭ್ರಮ ಮನೆಮಾಡಿತು. ಪಕ್ಷದ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂತಸ ವ್ಯಕ್ತಪಡಿಸಿದರು. ಬಸವಂತಪ್ಪ ಅವರ ನಿವಾಸದ ಎದುರು ಬೆಳಗ್ಗಿನಿಂದಲೇ ಕಾರ್ಯಕರ್ತರು, ಮುಖಂಡರು ಹಾಗೂ ಅಭಿಮಾನಿಗಳು ಜಮಾಯಿಸಿ ಅಭಿನಂದನೆ ಸಲ್ಲಿಸಿದರು. ಮಹಿಳೆಯರು ಆರತಿ ಬೆಳಗಿ ಸ್ವಾಗತ ಕೋರಿದರೆ, ಯುವಕರು ಘೋಷಣೆಗಳನ್ನು ಕೂಗಿ ಸಂಭ್ರಮಾಚರಣೆ ನಡೆಸಿದರು.

ಕೆ.ಎಸ್. ಬಸವಂತಪ್ಪ ಅವರು ಹಲವು ವರ್ಷಗಳಿಂದ ಸಾರ್ವಜನಿಕ ಜೀವನದಲ್ಲಿ ಸಕ್ರಿಯರಾಗಿದ್ದು, ರೈತರ ಸಮಸ್ಯೆಗಳು, ಕುಡಿಯುವ ನೀರಿನ ಯೋಜನೆಗಳು, ಗ್ರಾಮೀಣ ರಸ್ತೆ ಅಭಿವೃದ್ಧಿ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಿಗೆ ವಿಶೇಷ ಆದ್ಯತೆ ನೀಡುವ ಮೂಲಕ ಜನರ ವಿಶ್ವಾಸ ಗಳಿಸಿದ್ದಾರೆ. ಕ್ಷೇತ್ರದ ಅಭಿವೃದ್ಧಿಗೆ ನಿರಂತರವಾಗಿ ಶ್ರಮಿಸಿರುವ ಕಾರಣದಿಂದಲೇ ಅವರಿಗೆ ಸಚಿವ ಸ್ಥಾನ ದೊರೆತಿದೆ ಎಂಬ ಅಭಿಪ್ರಾಯವನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ.

ಮಾಯಕೊಂಡ ಕ್ಷೇತ್ರವು ಕೃಷಿ ಪ್ರಧಾನ ಪ್ರದೇಶವಾಗಿದ್ದು, ಇಲ್ಲಿ ನೀರಾವರಿ, ರಸ್ತೆ, ಶಿಕ್ಷಣ, ಕೈಗಾರಿಕಾ ಅಭಿವೃದ್ಧಿ ಹಾಗೂ ಉದ್ಯೋಗ ಸೃಷ್ಟಿಯಂತಹ ಹಲವು ಸವಾಲುಗಳಿವೆ. ಸಚಿವ ಸ್ಥಾನ ದೊರೆತಿರುವ ಹಿನ್ನೆಲೆಯಲ್ಲಿ ಈ ಸಮಸ್ಯೆಗಳ ಪರಿಹಾರಕ್ಕೆ ಹೆಚ್ಚಿನ ವೇಗ ಸಿಗಲಿದೆ ಎಂಬ ನಿರೀಕ್ಷೆ ಜನರಲ್ಲಿ ಮೂಡಿದೆ. ವಿಶೇಷವಾಗಿ ರೈತರು, ಯುವಕರು ಹಾಗೂ ಮಹಿಳಾ ಸಂಘಟನೆಗಳು ಹೊಸ ಸಚಿವರಿಂದ ಹೆಚ್ಚಿನ ಅಭಿವೃದ್ಧಿ ಯೋಜನೆಗಳನ್ನು ನಿರೀಕ್ಷಿಸುತ್ತಿವೆ.

ಸಚಿವ ಸ್ಥಾನ ಘೋಷಣೆಯ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಕೆ.ಎಸ್. ಬಸವಂತಪ್ಪ ಅವರು, “ಈ ಜವಾಬ್ದಾರಿ ನನಗೆ ದೊರೆತಿರುವುದು ವೈಯಕ್ತಿಕ ಗೌರವ ಮಾತ್ರವಲ್ಲ, ಮಾಯಕೊಂಡ ಕ್ಷೇತ್ರದ ಪ್ರತಿಯೊಬ್ಬ ಮತದಾರನಿಗೂ ಸಂದ ಗೌರವವಾಗಿದೆ. ಮುಖ್ಯಮಂತ್ರಿ ಹಾಗೂ ಪಕ್ಷದ ಹಿರಿಯ ನಾಯಕರು ನನ್ನ ಮೇಲೆ ಇಟ್ಟಿರುವ ವಿಶ್ವಾಸವನ್ನು ಉಳಿಸಿಕೊಳ್ಳಲು ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ. ಜನರ ನಿರೀಕ್ಷೆಗಳನ್ನು ಈಡೇರಿಸುವುದು ನನ್ನ ಮೊದಲ ಆದ್ಯತೆಯಾಗಿರುತ್ತದೆ” ಎಂದು ಹೇಳಿದರು.

ರಾಜ್ಯದ ಸಮಗ್ರ ಅಭಿವೃದ್ಧಿಗೆ ಸರ್ಕಾರ ಕೈಗೊಂಡಿರುವ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವುದರ ಜೊತೆಗೆ, ದಾವಣಗೆರೆ ಜಿಲ್ಲೆಗೆ ಹೆಚ್ಚಿನ ಅಭಿವೃದ್ಧಿ ಯೋಜನೆಗಳನ್ನು ತರಲು ಪ್ರಯತ್ನಿಸಲಾಗುವುದು ಎಂದು ಅವರು ಭರವಸೆ ನೀಡಿದರು. ರೈತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ, ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ, ಶಾಲೆಗಳು ಮತ್ತು ಆಸ್ಪತ್ರೆಗಳ ಸೌಲಭ್ಯಗಳ ಸುಧಾರಣೆ, ಯುವಕರಿಗೆ ಉದ್ಯೋಗಾವಕಾಶಗಳ ಸೃಷ್ಟಿ ಹಾಗೂ ಮಹಿಳಾ ಸಬಲೀಕರಣ ಕಾರ್ಯಕ್ರಮಗಳಿಗೆ ವಿಶೇಷ ಗಮನ ಹರಿಸಲಾಗುವುದು ಎಂದು ತಿಳಿಸಿದರು.

ಪಕ್ಷದ ಜಿಲ್ಲಾ ಮುಖಂಡರು ಮಾತನಾಡಿ, ಬಸವಂತಪ್ಪ ಅವರ ಸಚಿವ ಸ್ಥಾನದಿಂದ ಜಿಲ್ಲೆಗೆ ಹೆಚ್ಚಿನ ಅನುದಾನ ಮತ್ತು ಅಭಿವೃದ್ಧಿ ಯೋಜನೆಗಳು ಹರಿದು ಬರಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಆಡಳಿತಾತ್ಮಕ ಮಟ್ಟದಲ್ಲಿ ಜಿಲ್ಲೆಯ ವಿವಿಧ ಯೋಜನೆಗಳಿಗೆ ವೇಗ ಸಿಗಲಿದ್ದು, ಬಾಕಿ ಉಳಿದಿರುವ ಹಲವು ಕಾಮಗಾರಿಗಳು ಪೂರ್ಣಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಿದರು.

ವಿವಿಧ ಸಂಘಟನೆಗಳ ಪ್ರತಿನಿಧಿಗಳು ಸಹ ಸಚಿವರಿಗೆ ಅಭಿನಂದನೆ ಸಲ್ಲಿಸಿ, ಜಿಲ್ಲೆಯ ಬಹುಕಾಲದ ಬೇಡಿಕೆಗಳಾದ ನೀರಾವರಿ ಯೋಜನೆಗಳ ವಿಸ್ತರಣೆ, ಕೈಗಾರಿಕಾ ಹೂಡಿಕೆ, ಸರ್ಕಾರಿ ಆಸ್ಪತ್ರೆಗಳ ಉನ್ನತೀಕರಣ, ಸರ್ಕಾರಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಗ್ರಾಮೀಣ ರಸ್ತೆ ಸುಧಾರಣೆಗೆ ಆದ್ಯತೆ ನೀಡುವಂತೆ ಮನವಿ ಮಾಡಿದರು.

ಸಾಮಾಜಿಕ ಜಾಲತಾಣಗಳಲ್ಲಿಯೂ ಬಸವಂತಪ್ಪ ಅವರಿಗೆ ಅಭಿನಂದನೆಗಳ ಮಹಾಪೂರವೇ ಹರಿದುಬಂದಿತು. ಸಾರ್ವಜನಿಕರು, ರಾಜಕೀಯ ಮುಖಂಡರು, ವಿವಿಧ ಸಂಘಟನೆಗಳು ಹಾಗೂ ಅಭಿಮಾನಿಗಳು ಶುಭಾಶಯಗಳನ್ನು ತಿಳಿಸಿ, ಸಚಿವರ ಹೊಸ ಜವಾಬ್ದಾರಿ ಯಶಸ್ವಿಯಾಗಲಿ ಎಂದು ಹಾರೈಸಿದರು.

ರಾಜಕೀಯ ವಿಶ್ಲೇಷಕರ ಅಭಿಪ್ರಾಯದಂತೆ, ರಾಜ್ಯ ಸಚಿವ ಸಂಪುಟದಲ್ಲಿ ಮಾಯಕೊಂಡ ಕ್ಷೇತ್ರಕ್ಕೆ ದೊರೆತಿರುವ ಈ ಪ್ರತಿನಿಧಿತ್ವವು ದಾವಣಗೆರೆ ಜಿಲ್ಲೆಯ ರಾಜಕೀಯ ಮಹತ್ವವನ್ನು ಮತ್ತಷ್ಟು ಹೆಚ್ಚಿಸಿದೆ. ಅಭಿವೃದ್ಧಿ ಕಾರ್ಯಗಳಿಗೆ ವೇಗ ನೀಡುವ ಜೊತೆಗೆ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ಸಚಿವರ ಪಾತ್ರ ಮಹತ್ವದ್ದಾಗಿರಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಮಾಯಕೊಂಡ ಕ್ಷೇತ್ರದ ಜನರು ಸಚಿವ ಸ್ಥಾನವನ್ನು ಕೇವಲ ರಾಜಕೀಯ ಸಾಧನೆಯಾಗಿ ನೋಡದೇ, ಅಭಿವೃದ್ಧಿಯ ಹೊಸ ಅಧ್ಯಾಯದ ಆರಂಭವಾಗಿ ಪರಿಗಣಿಸುತ್ತಿದ್ದಾರೆ. ಕುಡಿಯುವ ನೀರು, ರಸ್ತೆ, ಕೃಷಿ, ಶಿಕ್ಷಣ, ಆರೋಗ್ಯ ಹಾಗೂ ಕೈಗಾರಿಕಾ ಕ್ಷೇತ್ರಗಳಲ್ಲಿ ಗಮನಾರ್ಹ ಬದಲಾವಣೆಗಳು ಆಗಲಿವೆ ಎಂಬ ಆಶಾಭಾವನೆ ವ್ಯಕ್ತವಾಗಿದೆ.

ಕೆ.ಎಸ್. ಬಸವಂತಪ್ಪ ಅವರ ಸಚಿವ ಸ್ಥಾನವು ಮಾಯಕೊಂಡ ಕ್ಷೇತ್ರ ಹಾಗೂ ದಾವಣಗೆರೆ ಜಿಲ್ಲೆಗೆ ಹೊಸ ಅವಕಾಶಗಳನ್ನು ತೆರೆದಿದೆ. ಜನರ ವಿಶ್ವಾಸಕ್ಕೆ ತಕ್ಕಂತೆ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡು ಸರ್ಕಾರ ಮತ್ತು ಜನರ ನಡುವೆ ಪರಿಣಾಮಕಾರಿ ಸೇತುವೆಯಾಗಿ ಕಾರ್ಯನಿರ್ವಹಿಸುವ ನಿರೀಕ್ಷೆ ಎಲ್ಲ ವಲಯಗಳಲ್ಲೂ ವ್ಯಕ್ತವಾಗಿದೆ. ಮುಂದಿನ ದಿನಗಳಲ್ಲಿ ಅವರ ಆಡಳಿತಾತ್ಮಕ ನಿರ್ಧಾರಗಳು ಹಾಗೂ ಅಭಿವೃದ್ಧಿ ಯೋಜನೆಗಳ ಅನುಷ್ಠಾನ ಜಿಲ್ಲೆಯ ಭವಿಷ್ಯದ ದಿಕ್ಕನ್ನು ನಿರ್ಧರಿಸಲಿವೆ ಎಂಬ ಅಭಿಪ್ರಾಯ ರಾಜಕೀಯ ಹಾಗೂ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಡಾ. ಪ್ರೀತಿ ಅವರಿಗೆ ‘ಪರಮ್ ಭೂಷಣ್ ನ್ಯಾಷನಲ್ ಎಕ್ಸಲೆನ್ಸ್ ಅವಾರ್ಡ್

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆಯ ಹೆಮ್ಮೆಯ ಶಿಕ್ಷಣ ತಜ್ಞೆ, ಉದ್ಯಮಿ ಹಾಗೂ Parvatha Global Ventures LLP ಸಂಸ್ಥೆಯ ಸಂಸ್ಥಾಪಕಿ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (Founder & CEO) ಡಾ. ಪ್ರೀತಿ ಅವರು ರಾಷ್ಟ್ರ ಮಟ್ಟದ ಪ್ರತಿಷ್ಠಿತ “Param Bhushan National Excellence Award – 2026” ಪ್ರಶಸ್ತಿಯನ್ನು ಪಡೆದಿದ್ದಾರೆ.

ಶಿಕ್ಷಣ, ಆಡಳಿತ, ಮಾನವ ಸಂಪನ್ಮೂಲ ಅಭಿವೃದ್ಧಿ, ಉದ್ಯಮಶೀಲತೆ ಹಾಗೂ ಸಮಾಜಸೇವೆಯಲ್ಲಿ ನೀಡಿದ ಅತ್ಯುತ್ತಮ ಕೊಡುಗೆಗಳನ್ನು ಪರಿಗಣಿಸಿ Jivran Foundation ವತಿಯಿಂದ ಈ ರಾಷ್ಟ್ರೀಯ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ.

ಡಾ. ಪ್ರೀತಿ ಅವರು ವಿದೇಶಿ ವೈದ್ಯಕೀಯ ಶಿಕ್ಷಣ (MBBS Abroad), ಉದ್ಯೋಗ ಮಾರ್ಗದರ್ಶನ, ಶಿಕ್ಷಣ ಸಲಹಾ ಸೇವೆಗಳು, ಕೌಶಲ್ಯಾಭಿವೃದ್ಧಿ ಹಾಗೂ ಯುವಜನರ ಸಬಲೀಕರಣ ಕ್ಷೇತ್ರಗಳಲ್ಲಿ ಗಮನಾರ್ಹ ಸೇವೆ ಸಲ್ಲಿಸುತ್ತಿದ್ದು, ಸಾವಿರಾರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ.

ಈ ಪ್ರಶಸ್ತಿ ಅವರ ಸಾಧನೆಗೆ ಮಾತ್ರವಲ್ಲದೆ, ಕರ್ನಾಟಕದ ಶಿಕ್ಷಣ ಮತ್ತು ಉದ್ಯಮ ಕ್ಷೇತ್ರಕ್ಕೂ ರಾಷ್ಟ್ರೀಯ ಮಟ್ಟದಲ್ಲಿ ದೊರೆತ ಗೌರವವಾಗಿದೆ.

ಈ ಸಂದರ್ಭದಲ್ಲಿ ವಿವಿಧ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು, ಸಮಾಜದ ಗಣ್ಯರು, ಉದ್ಯಮಿಗಳು ಹಾಗೂ ವಿದ್ಯಾರ್ಥಿಗಳು ಡಾ. ಪ್ರೀತಿ ಅವರಿಗೆ ಅಭಿನಂದನೆ ಸಲ್ಲಿಸಿ, ಮುಂದಿನ ದಿನಗಳಲ್ಲಿ ಇನ್ನಷ್ಟು ಉನ್ನತ ಸಾಧನೆಗಳನ್ನು ಮಾಡಲೆಂದು ಶುಭ ಹಾರೈಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending