ದಿನದ ಸುದ್ದಿ
ದಾವಣಗೆರೆ | ಜೂನ್ 14,16,18 ರಂದು ಬೆಳಿಗ್ಗೆ 6 ರಿಂದ 12 ರವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ; ಜೂನ್ 14 ರಿಂದ 21 ರವರೆಗೆ ಲಾಕ್‍ಡೌನ್ ಮುಂದುವರಿಕೆ : ಜಿಲ್ಲಾಧಿಕಾರಿ
ಸುದ್ದಿದಿನ,ದಾವಣಗೆರೆ: ಜಿಲ್ಲೆಯಲ್ಲಿ ಜೂನ್ 14 ರವರೆಗೆ ಇದ್ದ ಲಾಕ್‍ಡೌನ್ ಅನ್ನು ಜೂನ್ 21 ರ ಬೆಳಿಗ್ಗೆ 6 ರವೆರೆಗೆ ವಿಸ್ತರಿಸಿ ಆದೇಶಿಸಲಾಗಿದೆ.
ಜಿಲ್ಲಾಡಳಿತ ಭವನದಲ್ಲಿ ಇಂದು (ಶನಿವಾರ) ನಡೆದ ಸಭೆಯಲ್ಲಿ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಅವರು, ಈ ಹಿಂದಿನ ಮಾರ್ಗಸೂಚಿಯಂತೆ ಲಾಕ್‍ಡೌನ್‍ನ ಎಲ್ಲಾ ನಿರ್ಬಂಧಗಳು ಮುಂದುವರೆದಿದ್ದು, ಜೂನ್ 14, 16, 18 ರಂದು ಬೆಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ 12 ರವರೆಗೆ ಕಿರಾಣಿ ಅಂಗಡಿಗಳು, ದಿನಸಿ, ಹಣ್ಣು ತರಕಾರಿಗಳು, ಮಾಂಸ ಮತ್ತು ಮೀನು ಹಾಗೂ ಮದ್ಯದ ಅಂಗಡಿಗಳು, ಕೋವಿಡ್-19 ನಿರ್ವಹಣೆಯ ಸಂಬಂಧ ಹೊರಡಿಸಲಾದ ರಾಷ್ಟ್ರೀಯ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಷರತ್ತಿಗೆ ಒಳಪಟ್ಟು ಅನುಮತಿಸಲಾಗಿರುತ್ತದೆ.
ನಿರ್ಮಾಣ ಸ್ಥಳದಲ್ಲಿಯೇ ವಾಸವಾಗಿರುವ ಕಾರ್ಮಿಕರನ್ನು ಬಳಸಿಕೊಂಡು ನಿರ್ಮಾಣ ಕಾಮಗಾರಿಗಳನ್ನು ಕೈಗೊಳ್ಳಲು ಅನುಮತಿಸಲಾಗಿರುವ ಹಿನ್ನೆಲೆಯಲ್ಲಿ ಕಟ್ಟಡ ಕೆಲಸ, ಕಾಮಗಾರಿಗಳು, ಕಟ್ಟಡ ಕಾಮಗಾರಿ ಸಾಮಾಗ್ರಿ ಮತ್ತು ಅಗತ್ಯ ವಸ್ತುಗಳಾದ ಸಿಮೆಂಟ್, ಕಬ್ಬಿಣ, ಪೇಂಟ್ಸ್, ಹಾರ್ಡ್‍ವೇರ್, ಗ್ಲಾಸ್, ಪ್ಲೆ-ವುಡ್, ಸಾಮಿಲ್ಸ್, ಎಲೆಕ್ಟ್ರೀಕಲ್ಸ್, ಟೈಲ್ಸ್ ಅಥವಾ ಮಾರ್ಬಲ್ಸ್, ಸ್ಯಾನಿಟರಿ ವೈರ್ಸ್ ಅಂಗಡಿಗಳ ಚಟುವಟಿಕೆಗಳನ್ನು ನಡೆಸಲು ಜೂನ್ 14, 16, 18 ರ ಬೆಳಿಗ್ಗೆ 9 ರಿಂದ 12 ಗಂಟೆಯವರೆಗೆ ಮೂರು ದಿನ ಅವಕಾಶ ಕಲ್ಪಿಸಲಾಗಿದೆ ಎಂದರು.
ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು ಹಾಗೂ ಜನಪ್ರತಿನಿಧಿಗಳೊಂದಿಗೆ ಈ ಬಗ್ಗೆ ಚರ್ಚೆ ನಡೆಸಿದ್ದು ಈ ಸಾಂಕ್ರಮಿಕವನ್ನು ತಡೆಗಟ್ಟಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಜಿಲ್ಲೆಯಲ್ಲಿ ಹತ್ತಕ್ಕಿಂತ ಹೆಚ್ಚು ಪಾಸಿಟಿವ್ ಪ್ರಕರಣಗಳು 25 ಗ್ರಾಮಗಳಲ್ಲಿ ವರದಿಯಾಗಿದ್ದು, ಆ ಗ್ರಾಮಗಳನ್ನು ಕಂಟೆನ್ಮೆಂಟ್ ಜೋನ್ ಮಾಡಲಾಗಿದೆ. ಈ ಗ್ರಾಮಗಳಲ್ಲಿ ವೈದ್ಯಕೀಯ ತುರ್ತು ಹಾಗೂ ಅಗತ್ಯ ಸೇವೆಗಳ ಹೊರತುಪಡಿಸಿ ಗ್ರಾಮದಿಂದ ಹೊರ ಹಾಗೂ ಒಳ ಸಂಚಾರವನ್ನು ಕಟ್ಟುನಿಟ್ಟಾಗಿ ಬಿಗಿಗೊಳಿಸಲಾಗಿದೆ.
ನರೇಗಾ ಹಾಗೂ ಕೃಷಿ ಚಟುವಟಿಕೆಗಳಿಗೆ ಅವಕಾಶ ನೀಡಲಾಗಿದೆ. ಉಳಿದ ದಿನ ಹಾಲು ಮೊಟ್ಟೆ, ಮೆಡಿಕಲ್ ಅಂಗಡಿಗಳಿಗೆ ಅವಕಾಶ ಕಲ್ಪಿಸಲಾಗಿದ್ದು, ತರಕಾರಿ ಹಣ್ಣುಗಳನ್ನು ತಳ್ಳುಗಾಡಿ ಮುಖಾಂತರ ಮನೆ ಮನೆಗೆ ಹೋಗಿ ಮಾರಾಟ ಮಾಡಲು ಅನುವು ಮಾಡಿಕೊಡಲಾಗಿದೆ.
ಆದೇಶವನ್ನು ಉಲ್ಲಂಘಿಸಿದವರ ವಿರುದ್ಧ ಕಾನೂನಾತ್ಮಕ ಕ್ರಮ ತೆಗೆದುಕೊಳ್ಳಲಾಗುವುದು ಎಂದ ಅವರು,
6-10 ಪ್ರಕರಣಗಳಿರುವ 64 ಗ್ರಾಮಗಳಲ್ಲಿ ಸರ್ವೇಕ್ಷಣೆಯನ್ನು ತೀವ್ರಗೊಳಿಸಿ ಸ್ಥಳೀಯ ಗ್ರಾಮಪ್ರತಿನಿಧಿಗಳು, ಪಿಡಿಓ ಇವರುಗಳಿಂದ ಜಾಗೃತಿ ಮೂಡಿಸಿ ಟೆಸ್ಟ್ ಗಳನ್ನು ಹೆಚ್ಚು ಮಾಡಲು ನಿರ್ದೇಶಿಸಲಾಗಿದೆ. ಹಾಗೂ ಜಿಲ್ಲೆಯಲ್ಲಿ ಜೂ.1 ರಂದು ಶೇ.23.47, ಜೂ.9 ರಂದು ಶೇ.12.65, ಜೂ.10 ರಂದು ಶೇ.10.23, ಜೂ.11 ರಂದು ಶೇ.6.81 ರಷ್ಟು ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಪಾಸಿಟಿವ್ ದರ ಕಡಿಮೆಯಾಗುತ್ತಿದೆ. ಇದು ಹೀಗೆ ಮುಂದುವರಿಯಬೇಕು ಎಂದರೆ ನಿರ್ಬಂಧನೆಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕು ಎಂದರು.
ಅನಗತ್ಯವಾಗಿ ಮನೆಯಿಂದ ಯಾರು ಹೊರ ಬರಬಾರದು ಹಾಗೂ ಆಸ್ಪತ್ರೆಗಳಲ್ಲಿ ದಾಖಲಾಗಿರುವ ಕೋವಿಡ್ ಸೋಂಕಿತರನ್ನು ನೋಡಿಕೊಳ್ಳುವ ಅಟೆಂಡರ್‍ಗಳು ಸುಮ್ಮಸುಮ್ಮನೆ ಕಾರಣ ಹೇಳಿ ಹೊರಬರಬಾರದು ಎಂದು ಮನವಿ ಮಾಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಪಿ.ರಿಷ್ಯಂತ್ ಮಾತನಾಡಿ, ಜಿಲ್ಲೆಯಲ್ಲಿ 26 ಕಡೆ ಚೆಕ್‍ಪೋಸ್ಟ್ ಇದ್ದು ಅಲ್ಲಿ ಸಿಬ್ಬಂದಿಗಳನ್ನು ಹೆಚ್ಚಳ ಮಾಡಲಾಗುವುದು. ಕೆಲವೆಡೆ ಇಬ್ಬರು ಸಿಬ್ಬಂದಿ ಇದ್ದು ಸರಿಯಾಗಿ ಕರ್ತವ್ಯ ನಿರ್ವಹಿಸುತ್ತಿಲ್ಲ ಎಂಬ ದೂರು ಇದೆ. ಹಾಗಾಗಿ ಹೋಂ ಗಾರ್ಡ್ ಗಳನ್ನು ಪಡೆದು ಸಿಬ್ಬಂದಿ ನೇಮಕ ಮಾಡಲಾಗುವುದು.
ಹಾಗೂ ನಿಯಾಮ ಉಲ್ಲಂಘಿಸುವವರ ವಿರುದ್ಧ ಕೇಸ್ ದಾಖಲಾಗಿಸಲಾಗುವುದು. ಅನಗತ್ಯವಾಗಿ ರಸ್ತೆಯಲ್ಲಿ ಓಡಾಡುವ ಬೈಕ್ ಸವಾರರನ್ನು ದಂಡ ವಿಧಿಸಿ ವಾಹನಗಳನ್ನು ಸೀಜ್ ಮಾಡಲಾಗುವುದು. ಗ್ರಾಮೀಣ ಭಾಗದಲ್ಲಿ ಪ್ಯಾಟ್ರೋಲ್ ವಾಹನಗಳಿಂದ ಗಸ್ತು ನಡೆಸಲಾಗುವುದು. ಆಸ್ಪತ್ರೆಗಳಲ್ಲಿ ರೋಗಿಗಳನ್ನು ನೋಡಿಕೊಳ್ಳುವವರು ಹೆಚ್ಚಾಗಿದ್ದು ಅಲ್ಲಿ ಹೆಚ್ಚಿನ ಸಿಬ್ಬಂದಿಗಳನ್ನು ನೇಮಿಸಿ ಜನದಟ್ಟನೆ ನಿಯಂತ್ರಿಸಲಾಗುವುದು ಎಂದರು.
ಇದನ್ನೂ ಓದಿ | ದಾವಣಗೆರೆ | ಜಿಲ್ಲೆಯ 25 ಗ್ರಾಮಗಳು ನಿಯಂತ್ರಿತ ವಲಯ : ಜಿಲ್ಲಾಧಿಕಾರಿ https://suddidina.com/davanagere-25-villages-in-the-district-controlled-zone-district-collector/
ಜಿ.ಪಂ. ಸಿಇಒ ವಿಜಯ ಮಹಾಂತೇಶ ದಾನಮ್ಮನವರ್ ಮಾತನಾಡಿ, ಗ್ರಾಮೀಣ ಭಾಗದಲ್ಲಿ ಹೆಚ್ಚಾಗಿ ಜಾಗೃತಿ ಮೂಡಿಸಲಾಗುತ್ತಿದ್ದು, ಟೆಸ್ಟ್ ಗಳ ಸಂಖ್ಯೆ ಹೆಚ್ಚಿಸಲಾಗಿದೆ. ಹಾಗೂ ಪಾಸಿಟಿವ್ ದರ ಕಡಿಮೆಯಾಗುತ್ತಿದೆ. ಸೋಂಕಿತರನ್ನ ಕಡ್ಡಾಯವಾಗಿ ಕೋವಿಡ್ ಕೇರ್ ಸೆಂಟರ್‍ಗೆ ಕಳುಹಿಸಲು ತಿಳಿಸಲಾಗುತ್ತಿದೆ ಎಂದರು.
ಆರ್.ಸಿ.ಹೆಚ್ ಅಧಿಕಾರಿ ಡಾ.ಮೀನಾಕ್ಷಿ ಮಾಹಿತಿ ನೀಡಿ ಜಿಲ್ಲೆಯಲ್ಲಿ ಈಗಾಗಲೇ 3,69,925 ಜನರಿಗೆ ಲಸಿಕೆ ಹಾಕಲಾಗಿದೆ ಎಂದರು.
ಸಭೆಯಲ್ಲಿ ಎಸಿ ಮಮತ ಹೊಸಗೌಡರ್, ಕೋವಿಡ್ ನೋಡಲ್ ಅಧಿಕಾರಿ ಪ್ರಮೋದ್ ನಾಯಕ್, ಡಿಹೆಚ್‍ಒ ಡಾ.ನಾಗರಾಜ್, ಯೋಜನಾಧಿಕಾರಿ ನಜ್ಮಾ, ಎಎಸ್‍ಪಿ ರಾಜೀವ್, ಡಾ.ನಟರಾಜ್, ಡಾ.ಯತೀಶ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
25 ಗ್ರಾಮಗಳು ಕಂಟೆನ್ಮೆಂಟ್ ಜೋನ್ ವ್ಯಾಪ್ತಿಗೆ
ದಾವಣಗೆರೆ ತಾಲ್ಲೂಕಿನ ಅಣಬೇರು, ಕುಕ್ಕುವಾಡ, ಕೈದಾಳೆ, ಕುರ್ಕಿ, ತುರ್ಚಘಟ್ಟ, ಬೇತೂರು, ಕಾಶೀಪುರ, ಮಳಲಕೆರೆ ಗ್ರಾಮಗಳು, ಹರಿಹರ ತಾಲ್ಲೂಕಿನ ಗುತ್ತೂರು, ಕೆ.ಬೇವಿನಹಳ್ಳಿ, ನಂದಿತಾವರೆ, ಭಾನುವಳ್ಳಿ, ಹೊಳೆಸಿರಿಗೆರೆ, ಹಾಲಿವಾಣ ಗ್ರಾಮಗಳು, ಹೊನ್ನಾಳಿ ತಾಲ್ಲೂಕಿನ ಕುಳಗಟ್ಟೆ, ಹನುಮನಹಳ್ಳಿ, ಕೂಲಂಬಿ, ಗೊಲ್ಲರಹಳ್ಳಿ, ಐನೂರು ಗ್ರಾಮಗಳು, ನ್ಯಾಮತಿ ತಾಲ್ಲೂಕಿನ ದಾನಿಹಳ್ಳಿ, ಕುಂಕೊವ, ಫಲವನಹಳ್ಳಿ, ಸುರಹೊನ್ನೆ ಗ್ರಾಮಗಳು, ಚನ್ನಗಿರಿ ತಾಲ್ಲೂಕಿನ ಸಿದ್ದನಮಠ ಗ್ರಾಮ ಹಾಗೂ ಜಗಳೂರು ತಾಲ್ಲೂಕಿನ ಹೊಸಕೆರೆ ಗ್ರಾಮಗಳಲ್ಲಿ ಹತ್ತಕ್ಕಿಂತ ಹೆಚ್ಚು ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಈ ಗ್ರಾಮಗಳನ್ನು ಕಂಟೆನ್ಮೆಂಟ್ ಜೋನ್ ಎಂದು ಘೋಷಣೆ ಮಾಡಲಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಚಿತ್ರದುರ್ಗ | ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಡಿ.ಡಿ ಬಿ.ಮಲ್ಲಿಕಾರ್ಜುನ, ಕ್ರೈಸ್ ಇ.ಡಿ ಬಿ.ಶಿವಸ್ವಾಮಿ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ಚಿತ್ರದುರ್ಗ: ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ವಸತಿ ಶಾಲೆಗಳಿಗೆ (ಕ್ರೈಸ್) ನಿಯಮಾನುಸಾರ ಆಹಾರ ಸಾಮಾಗ್ರಿಗಳನ್ನು ಸರಬರಾಜು ಮಾಡದೆ ವಂಚಿಸುತ್ತಿರುವ ಶ್ರೀ ಶಿರಡಿ ಪ್ರಾವಿಜನ್ ಸ್ಟೋರ್, ಚಿಕ್ಕಬಳ್ಳಾಪುರ ಇವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರಿದ ಚಿತ್ರದುರ್ಗ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಬಿ. ಮಲ್ಲಿಕಾರ್ಜುನ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಇದರ ಕಾರ್ಯನಿರ್ವಾಹಕ ನಿರ್ದೇಶಕರಾದ ಬಿ.ಶಿವಸ್ವಾಮಿ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ ವಸತಿ ಶಾಲೆಗಳಿಗೆ ಅಧಿಕೃತ ಟೆಂಡರುದಾರರಾದ ಶ್ರೀ ಶಿರಡಿ ಸಾಯಿ ಪ್ರಾವಿಜನ್ ಸ್ಟೋರ್, ಚಿಕ್ಕಬಳ್ಳಾಪುರ ಇವರು ನಿಯಮಾನುಸಾರ ಆಹಾರ ಸಾಮಾಗ್ರಿಗಳನ್ನು ವಿತರಣೆ ಮಾಡದೆ ಇರುವ ಅಧಿಕೃತ ಮಾಹಿತಿ ತಿಳಿದು, ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಚಿತ್ರದುರ್ಗ ಇವುಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳ ಪ್ರಾಂಶುಪಾಲರುಗಳಿAದ ಮಾಹಿತಿಹಕ್ಕು ಅಡಿಯಲ್ಲಿ ಪಡೆದ ದೃಢೀಕೃತ ದಾಖಲೆಗಳನ್ನು ಪರಿಶೀಲನೆ ಮಾಡಿದಾಗ ಆಹಾರ ಸಾಮಾಗ್ರಿ ಸರಬರಾಜಿನಲ್ಲಿ ಹಲವಾರು ಲೋಪದೋಷಗಳು ಕಂಡು ಬಂದಿರುತ್ತವೆ.
ಆದ ಕಾರಣ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಉಪ ನಿರ್ದೇಶಕರು, ಜಿಲ್ಲಾ ಸಮಾಜ ಕಲ್ಯಾಣ ನಾವು ದೂರು ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಯಾವುದೇ ಪ್ರತ್ಯುತ್ತರವನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ಇರುವ ಕಾರಣ ದಿನಾಂಕ: 21-04-2026 ರಂದು ಜ್ಞಾಪನವನ್ನು ನೀಡಲಾಗಿತ್ತು. ಆದರೆ ಜ್ಞಾಪನ ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಉಪ ನಿರ್ದೇಶಕರು, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ, ಚಿತ್ರದುರ್ಗ ದೂರು ಅರ್ಜಿಗೆ ಸಂಬAಧಿಸಿದAತೆ ತನಿಖಾ ವರದಿಯನ್ನಾಗಲಿ ಅಥವಾ ಪ್ರತ್ಯುತ್ತರವನ್ನಾಗಲಿ ನೀಡಿರುವುದಿಲ್ಲ.
ಈ ಬಗ್ಗೆ ಕಾರ್ಯನಿರ್ವಾಹಕ ನಿರ್ದೇಶಕರು, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಬೆಂಗಳೂರು ಇವರಿಗೆ ದೂರು ನೀಡಲಾಗಿತ್ತು. ಆದರೆ ಇವರು ಕೂಡ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಕರ್ತವ್ಯ ಲೋಪ ಎಸಗಿದ ಅಧಿಕಾರಿಗಳ ವಿರುದ್ದ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಾಳೆ ʼನಿರಾಕಾರ ವಿಶ್ವಕರ್ಮʼ ಕೃತಿ ಬಿಡುಗಡೆ
ಸುದ್ದಿದಿನ,ಬೆಂಗಳೂರು:ಕಾವ್ಯಸ್ಪಂದನ ಪ್ರಕಾಶನವು ಪ್ರಕಟಿಸಿರುವ ಪತ್ರಕರ್ತ, ಲೇಖಕ ಚಂದ್ರಶೇಖರ ಗಂಧನಹಳ್ಳಿ ಅವರ ʼನಿರಾಕಾರ ವಿಶ್ವಕರ್ಮʼ ಕೃತಿಯು ಸೆಪ್ಟೆಂಬರ್ 17ರಂದು ಬಿಡುಗಡೆಯಾಗಲಿದೆ. ಅಂದು ಬೆಳಗ್ಗೆ 10.30ಕ್ಕೆ ಮೈಸೂರು ಜಿಲ್ಲೆ, ಕೆ.ಆರ್.ನಗರ ತಾಲೂಕು ಆಡಳಿತ ಕಚೇರಿಯ ಸಭಾಂಗಣದಲ್ಲಿ ತಾಲೂಕು ಆಡಳಿತದ ಆಶ್ರಯ, ತಾಲೂಕು ವಿಶ್ವಕರ್ಮ ಸೇವಾ ಸಮಾಜ ಹಾಗೂ ತಾಲೂಕು ವಿಶ್ವಕರ್ಮ ಸಂಘದ ಜಂಟಿ ವತಿಯಿಂದ ಆಯೋಜಿಸಿರುವ ‘ವಿಶ್ವಕರ್ಮ ಜಯಂತಿ’ ಕಾರ್ಯಕ್ರಮದಲ್ಲಿ ಶಾಸಕರಾದ ಡಿ. ರವಿಶಂಕರ್ ಅವರು ಕೃತಿಯನ್ನು ಲೋಕಾರ್ಪಣೆ ಮಾಡಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಹಶೀಲ್ದಾರ್ ಜಿ. ಸುರೇಂದ್ರ ಮೂರ್ತಿ ಅವರು ವಹಿಸಲಿದ್ದಾರೆ. ತಾಲೂಕು ವಿಶ್ವಕರ್ಮ ಸೇವಾ ಸಮಾಜದ ಅಧ್ಯಕ್ಷ ರೇವಣ್ಣ, ತಾಲೂಕು ವಿಶ್ವಕರ್ಮ ಸಂಘದ ಅಧ್ಯಕ್ಷ ವೇಣುಗೋಪಾಲ್ ಎನ್., ಪದಾಧಿಕಾರಿಗಳಾದ ಈಶ್ವರಾಚಾರ್, ಚೇತನ್ ಮೂರ್ತಿ ಸೇರಿದಂತೆ ವಿಶ್ವಕರ್ಮ ಸಮುದಾಯದ ಮುಖಂಡರು ಹಾಗೂ ತಾಲೂಕು ಆಡಳಿತದ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ. ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಶ್ರೀ ಕಾಳಿಕಾಂಬಾ ದೇವಾಲಯದಲ್ಲಿ ವಿಶ್ವಕರ್ಮ ಜಯಂತಿ ಪ್ರಯುಕ್ತ ವಿಶೇಷ ಪೂಜೆ ನೆರವೇರಲಿದ್ದು, ಬಳಿಕ ಅಲ್ಲಿಂದ ತಾಲೂಕು ಆಡಳಿತ ಕಚೇರಿಯವರೆಗೆ ಮೆರವಣಿಗೆ ನಡೆಯಲಿದೆ.
ವಿಶೇಷವೆಂದರೆ, ಪ್ರಕಾಶಕರು ಹಾಗೂ ಆಯೋಜಕರ ಆಸಕ್ತಿಯ ಮೇರೆಗೆ ‘ನಿರಾಕಾರ ವಿಶ್ವಕರ್ಮ’ ಕೃತಿಯನ್ನು ತಿಂಗಳ ಅಂತರದಲ್ಲಿ ಮೂರು ಪ್ರತ್ಯೇಕ ಕಾರ್ಯಕ್ರಮಗಳಲ್ಲಿ ಬಿಡುಗಡೆ ಮಾಡಲಾಗುತ್ತಿದೆ. ಸೆಪ್ಟೆಂಬರ್ 17ರಂದು ಕೆ.ಆರ್.ನಗರದಲ್ಲಿ ಕೃತಿ ಬಿಡುಗಡೆಯಾದರೆ, ಸೆಪ್ಟೆಂಬರ್ 20ರಂದು ಬೆಂಗಳೂರಿನ ತಾತಗುಣಿಯ ವಿಶ್ವಕರ್ಮ ನಗರದಲ್ಲಿ ಕರ್ನಾಟಕ ರಾಜ್ಯ ವಿಶ್ವಕರ್ಮ ಮಹಾಮಂಡಳಿಯ ವತಿಯಿಂದ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ಕೃತಿ ಲೋಕಾರ್ಪಣೆಗೊಳ್ಳಲಿದೆ. ಹಾಗೆಯೇ, ನವೆಂಬರ್ 22ರಂದು ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಕಾವ್ಯಸ್ಪಂದನ ಪ್ರಕಾಶನ ಏರ್ಪಡಿಸಿರುವ ಕಾರ್ಯಕ್ರಮದಲ್ಲಿಯೂ ಈ ಕೃತಿ ಬಿಡುಗಡೆಯಾಗಲಿದೆ.
ಮಾನವ ನಾಗರಿಕತೆಯ ಇತಿಹಾಸವನ್ನು ತೆರೆದರೆ, ಅದರ ಪ್ರತಿಯೊಂದು ಪುಟದ ಹಿಂದೆಯೂ ಶ್ರಮಿಸಿದ ಅನಾಮಿಕ ಕೈಗಳು ಕಾಣಿಸುತ್ತವೆ. ಆ ಕೈಗಳು ಕಲ್ಲನ್ನು ಕೆತ್ತಿ ದೇವಸ್ಥಾನವಾಗಿಸಿವೆ, ಕಬ್ಬಿಣವನ್ನು ಬಡಿದು ಆಯುಧವಾಗಿಸಿವೆ, ಮರಕ್ಕೆ ರೂಪ ಕೊಟ್ಟು ಬಾಗಿಲಾಗಿಸಿವೆ, ಮಣ್ಣಿಗೆ ಜೀವ ತುಂಬಿ ಮಡಕೆಯಾಗಿಸಿವೆ; ಹಾಗೆಯೇ ಬಣ್ಣಗಳ ಮೂಲಕ ಅಚ್ಚಳಿಯದ ಭಾವನೆಗಳನ್ನು ಮೂಡಿಸಿವೆ. ಆ ಸೃಷ್ಟಿಶೀಲ ಕೈಗಳಿಗೆ ಬಹುಶಃ ಇತಿಹಾಸದ ಅಧಿಕೃತ ಪುಟಗಳಲ್ಲಿ, ರಾಜ-ಮಹಾರಾಜರ ಕಥೆಗಳ ನಡುವೆ ದೊಡ್ಡ ಅಕ್ಷರಗಳಲ್ಲಿ ಹೆಸರು ಸಿಕ್ಕಿಲ್ಲದಿರಬಹುದು. ಆದರೆ ಅವರು ನಿರ್ಮಿಸಿದ ಕಲೆ, ಶಿಲ್ಪ, ವಾಸ್ತು, ಉಪಕರಣ ಮತ್ತು ಸೌಂದರ್ಯವೇ ನಮ್ಮ ನಾಗರಿಕತೆಯ ಉಸಿರಾಗಿ, ಜೀವಂತ ಸಾಕ್ಷಿಗಳಾಗಿ ಇಂದಿಗೂ ಉಳಿದಿವೆ. ಅಂತಹ ಸೃಜನಶೀಲ ಕೈಗಳ ಸಮೂಹ ಸ್ಮೃತಿಯನ್ನು, ಪರಂಪರೆಯನ್ನು ಮತ್ತು ಇತಿಹಾಸವನ್ನು ಅರಿಯುವ ಅರ್ಥಪೂರ್ಣ ಪ್ರಯತ್ನವನ್ನು ನಿರಾಕಾರ ವಿಶ್ವಕರ್ಮ ಕೃತಿಯಲ್ಲಿ ಲೇಖಕರಾದ ಚಂದ್ರಶೇಖರ ಗಂಧನಹಳ್ಳಿ ಅವರು ಮಾಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!
ಸುದ್ದಿದಿನ, ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆ ತನ್ನ 3 ವರ್ಷಗಳ ಸಾರ್ಥಕ ಪಯಣವನ್ನು ಪೂರ್ಣಗೊಳಿಸಿದೆ. `ಕುಟುಂಬಗಳ ಆರ್ಥಿಕ ಸಬಲೀಕರಣಕ್ಕೆ ಸಹಕಾರ’ ಎಂಬ ಧ್ಯೇಯದೊಂದಿಗೆ ಆರಂಭವಾದ ಈ ಯೋಜನೆ ಇಂದು ಕೋಟ್ಯಂತರ ಕುಟುಂಬಗಳ ಬದುಕಿಗೆ ಬೆಳಕಾಗಿದೆ.
ಹೌದು! 2023ರ ಆಗಸ್ಟ್‌ನಲ್ಲಿ ಜಾರಿಗೆ ಬಂದ ಈ ಯೋಜನೆಯಡಿ ರಾಜ್ಯದ ಪ್ರತಿಯೊಂದು ಕುಟುಂಬಕ್ಕೂ ಪ್ರತಿ ತಿಂಗಳು 200 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದ್ದು, ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಮಾಸಿಕ ಬಜೆಟ್‌ಗೆ ದೊಡ್ಡ ಆಸರೆಯಾಗಿದೆ ಎಂದೇ ಹೇಳಬಹುದು.
http://Visit : www.suddidina.com
ಗೃಹಜ್ಯೋತಿ ಯೋಜನೆಯ ಸಾಧನೆಯ ಗಿರಿ:
ಇಂಧನ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ರಾಜ್ಯದ್ಯಂತ ಬರೋಬ್ಬರಿ 1.65 ಕೋಟಿ. ಫಲಾನುಭವಿಗಳು ಕುಟುಂಬಗಳು ಯೋಜನೆಯ ಪ್ರಯೋಜನ ಪಡೆದುಕೊಳ್ಳುತ್ತಿದ್ದರೆ, ಸೇವಾಸಿಂಧು ಪೋರ್ಟಲ್‌ನಲ್ಲಿ ಒಟ್ಟು 1,76,69,368 ಜನರು ನೋಂದಾಯಿಸಿಕೊಂಡಿದ್ದರೆ. ಒಟ್ಟು 2,06,65,451 ಗೃಹಬಳಕೆ ವಿದ್ಯುತ್ ಗ್ರಾಹಕರಿದ್ದಾರೆ. ಅಂದರೆ ಶೇ.85ಕ್ಕಿಂತ ಹೆಚ್ಚು ಗ್ರಾಹಕರು ಈ ಯೋಜನೆಯಡಿ ನೋಂದಾಯಿಸಿಕೊಂಡು ಲಾಭ ಪಡೆಯುತ್ತಿದ್ದಾರೆ.
ಆರ್ಥಿಕವಾಗಿ ನೋಡುವುದಾದರೆ, 2023ರ ಆಗಸ್ಟ್‌ನಿಂದ 2026ರ ಜುಲೈ ವರೆಗೆ, ಕಳೆದ ಮೂರು ವರ್ಷಗಳಲ್ಲಿ ಸರ್ಕಾರವು ಫಲಾನುಭವಿಗಳಿಗೆ ಒಟ್ಟು ₹28,759.54 ಕೋಟಿ ರೂಪಾಯಿ ಸಬ್ಸಿಡಿ ಬಿಡುಗಡೆ ಮಾಡಿದೆ. ಇದು ಸರ್ಕಾರದ ಬದ್ಧತೆ ಮತ್ತು ಜನಪರ ಕಾಳಜಿಗೆ ಹಿಡಿದ ಕನ್ನಡಿಯಾಗಿದೆ.
ಕುಟುಂಬದ ಬಜೆಟ್‌ಗೆ ಆಸರೆ, ಉಜ್ವಲ ಭವಿಷ್ಯಕ್ಕೆ ಬುನಾದಿ:
ಪ್ರತಿ ತಿಂಗಳು 1000 ದಿಂದ 1500 ರೂಪಾಯಿಗಳವರೆಗೆ ವಿದ್ಯುತ್ ಬಿಲ್ ಕಟ್ಟುತ್ತಿದ್ದ ಸಾಮಾನ್ಯ ಕುಟುಂಬಗಳಿಗೆ ಈಗ ಆ ಹಣ ಸಂಪೂರ್ಣವಾಗಿ ಉಳಿತಾಯವಾಗುತ್ತಿದೆ. ಈ ಉಳಿತಾಯದ ಹಣವನ್ನು ಅವರು ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ಇತರ ಅಗತ್ಯಗಳಿಗೆ ಬಳಸಿಕೊಳ್ಳುತ್ತಿದ್ದಾರೆ. ವಿಶೇಷವಾಗಿ ಗೃಹಿಣಿಯರಿಗೆ ಇದು ಆರ್ಥಿಕವಾಗಿ ದೊಡ್ಡ ನೆರವಾಗಿದೆ.
ಕೇವಲ ಉಚಿತ ವಿದ್ಯುತ್ ನೀಡುವುದಷ್ಟೇ ಅಲ್ಲ, ಜನರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವುದೇ ಈ ಯೋಜನೆಯ ಮುಖ್ಯ ಗುರಿಯಾಗಿದ್ದು, ರಾಜ್ಯದ ಜನರ ಜೀವನಮಟ್ಟ ಸುಧಾರಿಸಿದೆ. ಗೃಹ ಜ್ಯೋತಿ ಯೋಜನೆಯು ಕೇವಲ ಒಂದು ಯೋಜನೆಯಾಗಿ ಉಳಿಯದೆ, ಕರ್ನಾಟಕದ ಸಾಮಾಜಿಕ ಮತ್ತು ಆರ್ಥಿಕ ಪರಿವರ್ತನೆಯಲ್ಲಿ ಮಹತ್ವದ ಮೈಲಿಗಲ್ಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕುಟುಂಬಗಳನ್ನು ಈ ಯೋಜನೆಯಡಿ ತರಲು ಇಂಧನ ಇಲಾಖೆ ಕ್ರಮ ಕೈಗೊಳ್ಳುತ್ತಿದೆ.




