ದಿನದ ಸುದ್ದಿ
ದಾವಣಗೆರೆ | ಜಿಲ್ಲೆಯಲ್ಲಿ ಸೋಂಕಿತ 142 ಮಂದಿ ಗರ್ಭಿಣಿಯರಿಗೆ ಸುರಕ್ಷಿತ ಹೆರಿಗೆ : ಎರಡನೆ ಅಲೆಯ ನಡುವೆ ಕೋವಿಡ್ ಸೋಂಕು ಗೆದ್ದ ಬಾಣಂತಿಯರು, ಹಸುಗೂಸುಗಳು
ಸುದ್ದಿದಿನ,ದಾವಣಗೆರೆ : ಕೋವಿಡ್ ಸೋಂಕಿನ ಭೀತಿ ಗಟ್ಟಿಮುಟ್ಟಾಗಿರುವವರನ್ನೇ ಹೈರಾಣಾಗಿಸುವಂತಹ ಪರಿಸ್ಥಿತಿ ಇರುವ ಈ ಸಂದರ್ಭದಲ್ಲಿ, ಜಿಲ್ಲೆಯಲ್ಲಿ ಕೋವಿಡ್ ಸೋಂಕಿತ ಗರ್ಭಿಣಿಯರು, ಬಾಣಂತಿಯರು ಮತ್ತು ಹಸುಗೂಸುಗಳು ಗುಣಮುಖರಾಗುವ ಮೂಲಕ ಕೊರೊನಾವನ್ನು ಗೆದ್ದಿದ್ದಾರೆ.
ದಾವಣಗೆರೆಯ ಚಿಗಟೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಕೋವಿಡ್ ಸೋಂಕಿತ ಗರ್ಭಿಣಿಯರ ಚಿಕಿತ್ಸೆಗಾಗಿಯೇ ಪ್ರತ್ಯೇಕ ಐಸೋಲೇಷನ್ ವಾರ್ಡ್ ಪ್ರಾರಂಭಿಸಲಾಗಿದೆ. ಇಲ್ಲಿಯೂ ಕೂಡ ಬೆಡ್ ನಡುವೆ ಸಾಮಾಜಿಕ ಅಂತರ ಕಾಯ್ದುಕೊಂಡು, ವಿಶೇಷವಾಗಿ ಕೋವಿಡ್ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಸೊಂಕಿತ ಗರ್ಭಿಣಿಯರಲ್ಲಿ ಮಾನಸಿಕ ಸ್ಥೈರ್ಯ ತುಂಬುವ ಹಾಗೂ ಉತ್ತಮ ಚಿಕಿತ್ಸೆ ನೀಡುವುದರ ಜೊತೆಗೆ ಸುರಕ್ಷಿತ ಹೆರಿಗೆಯನ್ನೂ ಇಲ್ಲಿನ ವೈದ್ಯರು ಕೈಗೊಂಡು ಪ್ರಶಂಸೆಗೆ ಪಾತ್ರರಾಗಿದ್ದಾರೆ.
ಕೊರೊನಾ ಮೂರನೆ ಅಲೆ ಮಕ್ಕಳಿಗೆ ತೀವ್ರ ಸಂಕಷ್ಟ ತರುವ ಸಾಧ್ಯತೆ ಇದೆ ಎನ್ನುವಂತಹ ಅಭಿಪ್ರಾಯವನ್ನು ತಜ್ಞರು ವ್ಯಕ್ತಪಡಿಸಿರುವ ಸಂದರ್ಭದಲ್ಲಿಯೇ, ಕೊರೋನಾ ಸೋಂಕಿತ ಗರ್ಭಿಣಿಯರಿಗೆ ಸುರಕ್ಷಿತ ಹೆರಿಗೆ ಮಾಡಿಸಿ, ಬಾಣಂತಿಯರು ಹಾಗೂ ಹಸುಗೂಸುಗಳು ಕೊರೋನಾ ಸೋಂಕಿನಿಂದ ಗುಣಮುಖರಾಗಿರುವುದು, ಆತಂಕದ ನಡುವಿನ ಒಳ್ಳೆಯ ಸುದ್ದಿ.
ಸೋಂಕು ಗೆದ್ದ 142 ಬಾಣಂತಿಯರು
ಕೋವಿಡ್‍ನ ಎರಡನೆ ಅಲೆ ಪ್ರಾರಂಭವಾದ ಏಪ್ರಿಲ್ ನಿಂದ ಈವರೆಗೆ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತ ಒಟ್ಟು 124 ಗರ್ಭಿಣಿಯರಿಗೆ ದಾವಣಗೆರೆಯ ಚಿಗಟೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಸುರಕ್ಷಿತವಾಗಿ ಹೆರಿಗೆ ಮಾಡಿಸಲಾಗಿದೆ. ಈ ಪೈಕಿ 70 ಸೋಂಕಿತ ಗರ್ಭಿಣಿಯರಿಗೆ ನಾರ್ಮಲ್ ಹೆರಿಗೆಯಾಗಿದ್ದರೆ, 54 ಸಿಸೇರಿಯನ್ ಹೆರಿಗೆಗಳಾಗಿವೆ. 18 ಹಸುಗೂಸುಗಳಿಗೆ ಸೋಂಕು ತಗುಲಿದ್ದು, ಈ ಪೈಕಿ 16 ಶಿಶುಗಳು ಕೊರೊನಾ ಸೋಂಕಿನಿಂದ ಗುಣಮುಖವಾಗಿವೆ.
ತೀವ್ರ ಕ್ಲಿಷ್ಟಕರ ಪರಿಸ್ಥಿತಿಯ ಕಾರಣದಿಂದ ಕೇವಲ 02 ಶಿಶುಗಳು ಮಾತ್ರ ಸೋಂಕು ಗೆಲ್ಲಲಾರದೆ ಸಾವಿಗೆ ಶರಣಾಗಿವೆ. ‘ಜಿಲ್ಲಾ ಆಸ್ಪತ್ರೆಯಲ್ಲಿನ ವೈದ್ಯರು ಹಾಗೂ ಶುಶ್ರೂಷಕರು ಸೋಂಕಿತ ಗರ್ಭಿಣಿಯರು, ಬಾಣಂತಿಯರ ಹಾಗೂ ಹಸುಗೂಸುಗಳ ಆರೋಗ್ಯ ಸುರಕ್ಷತೆಗಾಗಿ ಕೈಗೊಂಡ ವಿಶೇಷ ಕಾಳಜಿಯಿಂದಾಗಿ, ಇವರು ಸೋಂಕಿನಿಂದ ಗುಣಮುಖರಾಗಲು ಸಾಧ್ಯವಾಯಿತು.
ಗರ್ಭಿಣಿಯರು, ಬಾಣಂತಿಯರು ಕೊರೊನಾ ವಿಷಯದಲ್ಲಿ ಎಚ್ಚರಿಕೆ ವಹಿಸುವುದು ಒಳ್ಳೆಯದು, ಯಾವುದೇ ಆರೋಗ್ಯ ಸಮಸ್ಯೆ ಕಂಡುಬಂದರೂ, ತಕ್ಷಣ ವೈದ್ಯರ ಗಮನಕ್ಕೆ ತಂದು ಚಿಕಿತ್ಸೆ ಪಡೆದರೆ ಯಾವುದೇ ಸಮಸ್ಯೆಯಾಗುವುದಿಲ್ಲ’ ಎನ್ನುತ್ತಾರೆ ಜಿಲ್ಲಾಸ್ಪತ್ರೆಯ ತಜ್ಞ ವೈದ್ಯ ಡಾ. ಗಿರಿಧರ್ ಅವರು.
ಜಿಲ್ಲೆಯಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿಯೂ ಒಟು 18 ಸೋಂಕಿತ ಗರ್ಭಿಣಿಯರಿಗೆ ಸುರಕ್ಷಿತ ಹೆರಿಗೆಯಾಗಿದ್ದು, ಈ ಪೈಕಿ 07 ಸಹಜ ಹೆರಿಗೆ ಹಾಗೂ 11 ಸಿಸೇರಿಯನ್ ಹೆರಿಗೆ ಮಾಡಿಸಲಾಗಿದೆ.
ಎದೆ ಹಾಲಿನಿಂದ ಸೊಂಕು ಹರಡಲ್ಲ : ಕೊರೊನಾ ಇದ್ದರೂ ಕೂಡ ಮಾಸ್ಕ್ ಧರಿಸಿ, ತಾಯಂದಿರು ಹಸುಗೂಸುಗಳಿಗೆ ಹಾಲುಣಿಸಬಹುದು. ತಾಯಿಯ ಎದೆ ಹಾಲಿನಿಂದ ಕೊರೊನಾ ಸೋಂಕು ಮಗುವಿಗೆ ಹರಡುವುದಿಲ್ಲ.
ಆದರೆ ಹಾಲುಣಿಸುವಾಗ ತಾಯಂದಿರು ಅತ್ಯಂತ ಎಚ್ಚರಿಕೆ ವಹಿಸಬೇಕು. ಮಾಸ್ಕ್ ಧರಿಸದೆ ಕೆಮ್ಮುವುದು, ಸೀನುವುದು ಮಾಡುವುದರಿಂದ ಮಗುವಿಗೆ ಸೋಂಕು ತಗಲುವ ಸಾಧ್ಯತೆಗಳಿರುತ್ತವೆ. ಹೀಗಾಗಿ ತಾಯಂದಿರು ತಪ್ಪದೆ ಮಾಸ್ಕ್ ಧರಿಸಿಯೇ ಮಗುವಿಗೆ ಹಾಲುಣಿಸಬೇಕು, ಬಳಿಕ ಮಗುವನ್ನು ಸುರಕ್ಷಿತ ಅಂತರದಲ್ಲಿ ಪ್ರತ್ಯೇಕವಾಗಿ ಮಲಗಿಸಬೇಕು, ಹಾಲುಣಿಸುವ ಮೊದಲು ಹಾಗೂ ನಂತರ, ಪ್ರತಿ ಬಾರಿಯೂ ತಾಯಿ ಕೈಯನ್ನು ಸಾಬೂನಿನಿಂದ ಸ್ವಚ್ಛವಾಗಿ ತೊಳೆದುಕೊಳ್ಳಬೇಕು.
ಒಂದು ವೇಳೆ ಬಾಟಲಿಯಿಂದ ಮಗುವಿಗೆ ಹಾಲುಣಿಸುತ್ತಿದ್ದರೆ, ಪ್ರತಿ ಬಾರಿಯೂ ನಿಪ್ಪಲ್ ಅನ್ನು ಬಿಸಿ ನೀರಿನಿಂದ ತಪ್ಪದೆ ಸ್ವಚ್ಛಗೊಳಿಸಬೇಕು. ಸೊಂಕು ಮುಕ್ತವಾಗುವವರೆಗೂ ತಾಯಂದಿರು ಈ ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸಿದಲ್ಲಿ, ತಾಯಿ, ಮಗುವಿನ ಆರೋಗ್ಯಕ್ಕೆ ಯಾವುದೇ ತೊಂದರೆಯಾಗುವುದಿಲ್ಲ ಎನ್ನುತ್ತಾರೆ ಜಿಲ್ಲಾ ಆರ್‍ಸಿಹೆಚ್ ಅಧಿಕಾರಿ ಡಾ. ಮೀನಾಕ್ಷಿ ಅವರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | 18 ನೇ ವಾರ್ಡ್ ನಲ್ಲಿ ಕೈ ಅಭ್ಯರ್ಥಿ ಸಮರ್ಥ ಶಾಮನೂರು ಪ್ರಚಾರ
ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಸಮರ್ಥ್ ಶಾಮನೂರು ಅವರು ಮಂಗಳವಾರ 18 ನೇ ವಾರ್ಡ್ ವ್ಯಾಪ್ತಿಯಲ್ಲಿ ಅಬ್ಬರ ಪ್ರಚಾರ ನಡೆಸಿದರು.
ನಗರದ ಬಾರ್ ಲೈನ್ ದರ್ಗಕ್ಕೆ ತೆರಳಿ ಚಾದರ ಅರ್ಪಿಸಿದ ಸಮರ್ಥ ಶಾಮನೂರು ಅವರಿಗೆ ಮುಸ್ಲಿಂ ಸಮಾಜದ ಬಾಂಧವರು ಆತ್ಮೀಯವಾಗಿ ಸನ್ಮಾನಿಸಿದರು. ಬಳಿಕ ಅಲ್ಲಿಂದ ಪ್ರಚಾರವನ್ನು ಆರಂಭಿಸಿದ ಅವರು ಎಂ.ಬಿ ಕೇರಿ, ಮಟನ್ ಮಾರ್ಕೇಟ್, ಗಡಿಯಾರ ಕಂಬ, ಸ್ವಾಗೇರ್ ಪೇಟೆ, ಹೊಂಡದ ರಸ್ತೆ, ಕಾಯಿಪೇಟೆಯ ಮನೆ ಮನೆಗೆ ತೆರಳಿ ಮತಯಾಚಿಸಿದರು.
ಕಾಂಗ್ರೆಸ್ ಪಕ್ಷದ ಮುಖಂಡರಾದ ನರಸಿಂಹಪ್ಪ, ರವಿಕುಮಾರ್, ಕಾಶಿನಾಥ್ ಅವರ ಮನೆಗೆ ಅಭ್ಯರ್ಥಿ ಸಮರ್ಥ ಶಾಮನುರು ಅವರು ಭೇಟಿ ನೀಡಿದಾಕ್ಷಣ ಕುಟುಂಬಸ್ಥರು ದಿವಂಗತರಾದ ಡಾ.ಶಾಮನೂರು ಶಿವಶಂಕರಪ್ಪ ಅವರನ್ನು ನೆನೆದು ಭಾವುಕರಾದರು. ಶಾಮನೂರು ಸಮರ್ಥ ಅವರಿಗೆ ದಕ್ಷಿಣ ಕ್ಷೇತ್ರದಲ್ಲಿ ಪ್ರಚಂಡ ಬಹುಮತವನ್ನು ನೀಡಿ ಗೆಲ್ಲಿಸುತ್ತೇವೆ ಎಂದು ಮತದಾರರು ಅಭಿಪ್ರಾಯ ವ್ಯಕ್ತಪಡಿಸಿದರು.
ಸ್ಥಳೀಯ ಮುಖಂಡರಾದ ಚಂದ್ರ ಶೇಖರ್, ಸೋಗಿ ಶಾಂತಕುಮಾರ್, ಪ್ರವೀಣ್ ರಾವ್, ಬಕ್ಕೇಶ್, ಪರಮೇಶ್, ಜಯರಾಜ್, ಹನುಮಂತ್, ರಾಘವೇಂದ್ರ, ಭೀಮಣ್ಣ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಕರ್ನಾಟಕ ಜಾಹೀರಾತು ನೀತಿಗೆ ಸಂಪಾದಕರ ವಿರೋಧ ; ಸಿಎಂಗೆ ಮನವಿ
ನೀತಿಯನ್ನು ಪರಿಶೀಲಿಸುವ ಭರವಸೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಸುದ್ದಿದಿನ,ದಾವಣಗೆರೆ: ಕರ್ನಾಟಕ ಜಾಹೀರಾತು ನೀತಿ-2026 ರಲ್ಲಿ ಪತ್ರಿಕೆಗಳಿಗೆ ಮಾರಕವಾದ ನಿಯಮಗಳನ್ನು ಕೈಬಿಡುವಂತೆ ಕೋರಿ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ದಾವಣಗೆರೆ ಜಿಲ್ಲಾ ವರದಿಗಾರರ ಕೂಟದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸೋಮವಾರ ಮಧ್ಯಾಹ್ನ ನಗರದ ಎಂ.ಬಿ.ಎ ಗ್ರೌಂಡ್ ಹೆಲಿಪ್ಯಾಡ್ ನಲ್ಲಿ ಮನವಿ ಸಲ್ಲಿಸಲಾಯಿತು.
ರಾಜ್ಯದಲ್ಲಿ ಜಾರಿಗೆ ತರಲು ಹೊರಟಿರುವ ಕರ್ನಾಟಕ ಜಾಹೀರಾತು ನೀತಿ-2026 ಜಿಲ್ಲಾ ಮಟ್ಟದ ಮತ್ತು ಪ್ರಾದೇಶಿಕ ಮಟ್ಟದ ಪತ್ರಿಕೆಗಳಿಗೆ ಮಾರಕವಾಗಿದ್ದು,ಇದರಿಂದ ಶತಶತಮಾನಗಳಿಂದ ಸಮಾಜದ ಮತ್ತು ಸರ್ಕಾರದ ಕೊಂಡಿಯಾಗಿ ಸೇವೆ ಮಾಡುತ್ತಿರುವ ಪತ್ರಿಕೆಗಳು ಮುಚ್ಚುತ್ತವೆ. ಯಾವುದೇ ಕಾರಣಕ್ಕೂ ಪತ್ರಿಕೆಗಳಿಗೆ ಮಾರಕವಾಗುವ ನಿಯಮಗಳನ್ನು ಅಳವಡಿಸದೇ ಪತ್ರಿಕೆಗಳ ಏಳಿಗೆಗೆ ಪೂರಕವಾದ ಅಂಶಗಳನ್ನು ಸೇರಿಸಿ ಕರ್ನಾಟಕ ಜಾಹೀರಾತು ನೀತಿಯನ್ನು ಜಾರಿಗೆ ತರಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ , ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರಿಗೆ ಮನವರಿಕೆ ಮಾಡಿಕೊಡಲಾಯಿತು.
ಸಂಘಗಳ ಮನವಿ ಸ್ವೀಕರಿಸಿದ ಮುಖ್ಯಮಂತ್ರಿಗಳು ಜಾಹೀರಾತು ನೀತಿ ಪರಿಶೀಲಿಸುವ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘದ ರಾಜ್ಯಾಧ್ಯಕ್ಷರಾದ ಎ.ಸಿ.ತಿಪ್ಪೇಸ್ವಾಮಿ, ಜಿಲ್ಲಾ ಘಟಕದ ಅಧ್ಯಕ್ಷರಾದ ಸುರೇಶ್ ಆರ್ ಕುಣೆಬೆಳಕೆರೆ, ಖಜಾಂಜಿ ಶಿವಮೂರ್ತಿ ಟಿ.ಜಿ , ರಾಜ್ಯ ಸಂಘದ ನಾಮನಿರ್ದೇಶನ ಸದಸ್ಯ ಕೆ.ಜೈಮುನಿ ಮತ್ತು
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಅಧ್ಯಕರಾದ ಇ.ಎಂ.ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಬದ್ರಿನಾಥ್, ಖಜಾಂಚಿ ಜೆ.ಎಸ್.ವೀರೇಶ್ ಹಾಗೂ ದಾವಣಗೆರೆ ಜಿಲ್ಲಾ ವರದಿಗಾರರ ಕೂಟದ ಅಧ್ಯಕ್ಷರಾದ ನಾಗರಾಜ ಬಡದಾಳ್ , ಹಿರಿಯ ಪತ್ರಕರ್ತರಾದ ಕೆ.ಏಕಾಂತಮ್ಮ, ಬಿ.ಎನ್.ಮಲ್ಲೇಶ್, ಮಲ್ಲಿಕಾರ್ಜುನ ಕಬ್ಬೂರು, ಆರ್.ಎಸ್.ತಿಪ್ಪೇಸ್ವಾಮಿ, ಕೊಟ್ರೇಶ್ ಅಣಬೂರುಮಠ, ನಿಂಗಪ್ಪ, ಗೋವಿಂದ ರಾಜು, ಫಕೃದ್ದೀನ್, ಆರ್.ರವಿ,ಬಿ.ವಾಸುದೇವ, ರಾಘವೇಂದ್ರ ರಾವ್, ವೇದಮೂರ್ತಿ,ನಿಂಗಪ್ಪ, ಪರಶುರಾಮ, ನಂದಕುಮಾರ್ ಮುಂತಾದವರು ಇದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಹರಿಹರ ನಗರಸಭೆಯು 04 ಸಂಖ್ಯಾತಿರಿಕ್ತ ಪೌರಕಾರ್ಮಿಕರ ಹುದ್ದೆಗಳನ್ನು ವಿಶೇಷ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಪ್ರಸ್ತುತ ಹರಿಹರ ನಗರಸಭೆಯಲ್ಲಿ ಕೆಲಸ ನಿರ್ವಹಿಸುತ್ತಿರುವವರು ಹಾಗೂ ಈ ನಿಯಮ ಜಾರಿಗೆ ಬಂದ ದಿನಾಂಕದಲ್ಲಿಯೂ ಸದರಿ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಮಾರ್ಚ್ 11 ರಿಂದ ಅರ್ಜಿಗಳನ್ನು ಪಡೆದುಕೊಳ್ಳಬಹುದು.
ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಏಪ್ರಿಲ್ 10 ಕಡೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಅರ್ಜಿಗಳನ್ನು ಹರಿಹರ ನಗರಸಭೆ ಕಚೇರಿಯಿಂದ ಮಾತ್ರ ಪಡೆದುಕೊಳ್ಳಬೇಕು. ಹುದ್ದೆಗಳ ವರ್ಗೀಕರಣ, ಷರತ್ತುಗಳು, ವಯೋಮಿತಿ ಮತ್ತು ಅಗತ್ಯ ಅರ್ಹತೆಗಳ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಕಚೇರಿ ಸಮಯದಲ್ಲಿ ಹರಿಹರ ನಗರಸಭೆ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ದಾವಣಗೆರೆಯ ಜಿಲ್ಲಾಧಿಕಾರಿಗಳು ಹಾಗೂ ಆಯ್ಕೆ ಮತ್ತು ನೇರ ನೇಮಕಾತಿ ಪ್ರಾಧಿಕಾರದ ಅಧ್ಯಕ್ಷರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243


