ದಿನದ ಸುದ್ದಿ
ದಾವಣಗೆರೆ | ಇಎಸ್‍ಐ ಆಸ್ಪತ್ರೆಯಲ್ಲಿ 80 ಬೆಡ್ ವ್ಯವಸ್ಥೆ : ಡಿಸಿ ಮಹಾಂತೇಶ್ ಬೀಳಗಿ ಪರಿಶೀಲನೆ
ಸುದ್ದಿದಿನ,ದಾವಣಗೆರೆ : ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಹೆಚ್ಚುವರಿ ಕೋವಿಡ್ ಕೇರ್ ಸೆಂಟರ್ ತೆರೆಯಲು ನಗರದ ಇಎಸ್‍ಐ ಆಸ್ಪತ್ರೆಯಲ್ಲಿ 80 ಬೆಡ್ ವ್ಯವಸ್ಥೆಯುಳ್ಳ ಕೋವಿಡ್ ಸೆಂಟರ್ ತೆರೆಯುವ ಬಗ್ಗೆ ಪರಿಶೀಲಿಸಿ ವೈದ್ಯರುಗಳೊಂದಿಗೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಚರ್ಚೆ ನಡೆಸಿದರು.
ಬುಧವಾರ ಇಎಸ್‍ಐ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದ ಅವರು, ಇಎಸ್‍ಐ ಆಸ್ಪತ್ರೆಯಲ್ಲಿ 40 ಆಕ್ಸಿಜನ್ ಮತ್ತು 40 ಐಸೊಲೇಶನ್ ಬೆಡ್‍ಗಳು ಸೇರಿದಂತೆ ಒಟ್ಟು 80 ಬೆಡ್‍ಗಳ ಕೋವಿಡ್ ಆಸ್ಪತ್ರೆಯನ್ನಾಗಿ ಮಾಡಲು ಬೇಕಾದ ಅಗತ್ಯತೆಗಳ ಬಗ್ಗೆ ಅಲ್ಲಿನ ವೈದ್ಯಾಧಿಕಾರಿಗಳೊಂದಿಗೆ ಚರ್ಚಿಸಿದರು.
ಈ ವೇಳೆ ಇಎಸ್‍ಐ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಬಸವನಗೌಡ ಮಾತನಾಡಿ, ಆಸ್ಪತ್ರೆಯಲ್ಲಿ ಆಕ್ಸಿಜನ್ ಮತ್ತು ವೆಂಟಿಲೇಟರ್ ವ್ಯವಸ್ಥೆಗೆ 19 ಪಾಯಿಂಟ್‍ಗಳು ಇದ್ದು, ಅದರಲ್ಲಿ 2 ಕಡೆ ಲೀಕೇಜ್ ಆಗುತ್ತಿದೆ. ಆಸ್ಪತ್ರೆಯಲ್ಲಿ ಒಬ್ಬ ಟೆಕ್ನೀಷಿಯನ್ ಇದ್ದು ಇನ್ನೊಬ್ಬರ ಅಗತ್ಯವಿದೆ. ಹಾಗೂ ಬೆಡ್, ಸಿಲಿಂಡರ್ ವ್ಯವಸ್ಥೆ, ಫ್ಯಾನ್ ಸೇರಿದಂತೆ ಮೂಲ ಸೌಕರ್ಯಗಳು ಮತ್ತು ಮಾನವ ಸಂಪನ್ಮೂಲ ಕೊರತೆ ಇದ್ದು, ಸಾಧ್ಯವಾದಷ್ಟು ಜಿಲ್ಲಾಡಳಿತಕ್ಕೆ ಸಹಾಯ ಮಾಡಲು ತಾವು ಬದ್ಧರಿದ್ದೇವೆ ಎಂದರು.
ಅರಿವಳಿಕೆ ತಜ್ಞೆ ಡಾ.ನಂದಿನಿ ಮಾತನಾಡಿ, ಆಸ್ಪತ್ರೆಯಲ್ಲಿ ಐಸಿಯು ಇಲ್ಲವಾದ್ದರಿಂದ ಇಲ್ಲಿರುವ ಸಿಬ್ಬಂದಿಗಳಿಗೆÉ ಐಸಿಯು ನಿರ್ವಹಣೆ ಅನುಭವ ಇಲ್ಲ. ಅವರಿಗೆ ಒಂದು ವಾರದ ಮಟ್ಟಿಗೆ ತರಬೇತಿ ಕೊಟ್ಟಲ್ಲಿ ಅನುಕೂಲವಾಗುತ್ತದೆ. ಈಗಾಗಲೇ ಆಸ್ಪತ್ರೆಯಲ್ಲಿ 19 ಬೆಡ್‍ಗಳಿಗೆ ಆಕ್ಸಿಜನ್ ವ್ಯವಸ್ಥೆ ಇದೆ. 11 ಜಂಬೋ ಸಿಲಿಂಡರ್‍ಗಳು, 26 ಸಣ್ಣ ಸಿಲಿಂಡರ್‍ಗಳು ಹಾಗೂ 15 ಔಟ್‍ಲೆಟ್‍ಗಳು ಬೇಕಾಗುತ್ತದೆ ಎಂದು ತಿಳಿಸಿದರು.
ಇದನ್ನೂ ಓದಿ | ಕೋವಿಡ್ ನಿರೋಧಕ ಲಸಿಕೆ ಹಾಕಿಸಿಕೊಳ್ಳಲು ವಿಕಲಚೇತನರಿಗೆ ಸೂಚನೆ
ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಗಳು, ಆಸ್ಪತ್ರೆಗೆ 100 ಜಂಬೋ ಸಿಲಿಂಡರ್ ವ್ಯವಸ್ಥೆ ಮಾಡುವ ಜವಾಬ್ದಾರಿಯನ್ನು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳಿಗೆ ವಹಿಸಲಾಗುವುದು. ಆಸ್ಪತ್ರೆಗೆ ಬೇಕಾದ 70 ಮಂಚಗಳನ್ನು ಹೊರಗಡೆಯಿಂದ ತರಿಸುತ್ತೇವೆ. ಹಾಗೂ ಕಾಟನ್ ಬೆಡ್, ಫ್ಯಾನ್, ಐವಿ ಡ್ರಿಪ್, ಆಕ್ಸಿಜನ್ ಸಿಲಿಂಡರ್, ಬಿಪಿ ಆಪರೇಟರ್ಸ್‍ಗಳನ್ನು ದಾನಿಗಳಿಂದ ಪೂರೈಸುತ್ತೇವೆ. ಅಲ್ಲದೇ ಆಸ್ಪತ್ರೆಗೆ ಬೇಕಾದ ಟ್ರಾಲಿಗಳು, ವ್ಹೀಲ್‍ಚೇರ್‍ಗಳು, ಐವಿ ಸ್ಟ್ಯಾಂಡ್ ಇತರೆ ಸವಲತ್ತುಗಳ ಕುರಿತು ಮಾಹಿತಿ ನೀಡಿದರೆ ಜಿಲ್ಲಾಡಳಿತದಿಂದ ಪೂರೈಸುತ್ತೇವೆ ಎಂದರು.
ಆಸ್ಪತ್ರೆಯಲ್ಲಿ ಈಗಾಗಲೇ ಹೊರರೋಗಿಗಳ ಚಿಕಿತ್ಸೆ ನಡೆಯುತ್ತಿದ್ದು ಈ ವ್ಯವಸ್ಥೆಗೆ ಧಕ್ಕೆ ಆಗದಂತೆ ಕೋವಿಡ್ ಸೆಂಟರ್‍ನ್ನು ತೆರೆಯಬೇಕು. ಸಾಮಾನ್ಯ ರೋಗಿಗಳು ಹಾಗೂ ಕೋವಿಡ್ ಸೋಂಕಿತ ರೋಗಿಗಳಿಗೆ ಪ್ರತ್ಯೇಕ ದ್ವಾರಗಳನ್ನು ಮಾಡಬೇಕು ಹಾಗೂ ಸಂಬಂಧಪಟ್ಟ ವೈದ್ಯರು, ಸಿಬ್ಬಂದಿಗಳು ಸಹ ಆಯಾ ದ್ವಾರಗಳ ಮೂಲಕವೇ ಹೋಗಿಬರಬೇಕು. ಹಾಗೂ ಸೋಂಕಿತರಿಗೆ ಬಿಸಿನೀರು ವ್ಯವಸ್ಥೆ ಮಾಡಲು ಮತ್ತು ಆಸ್ಪತ್ರೆಗೆ ಬಂದ ರೋಗಿಗಳು ಬಿಸಿ ನೀರು ಕುಡಿಯಲು 2 ಯೂನಿಟ್‍ಗೆ ಒಂದರಂತೆ ಸ್ಟೌವ್ ವ್ಯವಸ್ಥೆ ಮಾಡಬೇಕು ಎಂದು ಸೂಚಿಸಿದರು.
ಸಿಜಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಸಂಜಯ್ ಮಾತನಾಡಿ, ಆಸ್ಪತ್ರೆಯಲ್ಲಿ ಸಿಟಿ ಸ್ಕ್ಯಾನ್ ವ್ಯವಸ್ಥೆ ಇಲ್ಲ. ಎಕ್ಸ್‍ರೇ ಯೂನಿಟ್ ಇದೆ ಆದರೆ ಫಿಲ್ಮ್‍ಗಳು ಇಲ್ಲ. ಆದ್ದರಿಂದ ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್ ಸೋಂಕಿತರನ್ನು ಮೊದಲ ಹಂತದ ಚಿಕಿತ್ಸೆ ಪೂರೈಸಿದ ಬಳಿಕ ಚೇತರಿಸಿಕೊಂಡ ರೋಗಿಗಳನ್ನು ಈ ಆಸ್ಪತ್ರೆಗೆ ವರ್ಗಾವಣೆ ಮಾಡಬಹುದು ಎಂದರು.
ನಂತರ ಜಿಲ್ಲಾಧಿಕಾರಿಗಳು ಮಾತನಾಡಿ, ಕೋವಿಡ್ ವೈದ್ಯಾಧಿಕಾರಿಗಳು, ಸಿಬ್ಬಂದಿಗಳು ಮತ್ತು ಡಿ ಗ್ರೂಪ್ ನೌಕರ ವರ್ಗದವರು ಸೇರಿ ಒಟ್ಟು 3 ತಂಡಗಳನ್ನು ರಚಿಸಿಕೊಳ್ಳಬೇಕು. ಪ್ರತಿ ತಂಡಕ್ಕೂ 3 ವೈದ್ಯರು, 3 ಸ್ಟಾಫ್ ನರ್ಸ್, 3 ಡಿ-ಗ್ರೂಪ್ ಸೇರಿದಂತೆ 9 ಜನರ ತಂಡ ರಚಿಸಬೇಕೆಂದು ಸೂಚನೆ ನೀಡಿದರು.
ಖಾಸಗಿ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಬೆಡ್ ಹಾಗೂ ವೆಂಟಿಲೇಟರ್ ಸಾಮಥ್ರ್ಯ ಹೆಚ್ಚಿಸಿಕೊಳ್ಳಬೇಕು ಎಂದು ಈಗಾಗಲೇ ಮನವಿ ಮಾಡಲಾಗಿದೆ. ಪ್ರತಿ ಆಸ್ಪತ್ರೆಗೂ ಒಬ್ಬ ನೋಡಲ್ ಅಧಿಕಾರಿಯನ್ನು ನೇಮಿಸಲಾಗಿದ್ದು, ಆಸ್ಪತ್ರೆಯ ಪ್ರತಿ ವಿಭಾಗದ ವರದಿಯನ್ನು ನೋಡಿಕೊಳ್ಳುವ ಮೂಲಕ ಪ್ರತಿನಿತ್ಯ ವರದಿ ನೀಡುತ್ತಿದ್ದಾರೆ. ಅನಗತ್ಯವಾಗಿ ಆಕ್ಸಿಜನ್ ಬಳಕೆ ಮಾಡಬಾರದು. ಅದನ್ನು ಔಷಧಿಯಂತೆ ಸಮರ್ಪಕವಾಗಿ ಬಳಸಬೇಕು ಎಂದು ತಿಳಿಸಿದರು.
ತಾಲ್ಲೂಕು ಆಸ್ಪತ್ರೆಗಳಲ್ಲಿರುವ ವೈದ್ಯರು ಅನಗತ್ಯವಾಗಿ ಅಲ್ಲಿರುವ ರೋಗಿಗಳನ್ನು ಜಿಲ್ಲಾಸ್ಪತ್ರೆಗೆ ಕಳುಹಿಸುತ್ತಿರುವುದು ಗಮನಕ್ಕೆ ಬಂದಿದೆ. ಸ್ಥಳೀಯವಾಗಿ ಗುಣಮುಖರಾಗುವ ರೋಗಿಗಳನ್ನು ಆದಷ್ಟು ಅಲ್ಲಿಯೇ ಚಿಕಿತ್ಸೆ ನೀಡಬೇಕೇ ಹೊರತು ನಗರದ ಆಸ್ಪತ್ರೆಗಳಿಗೆ ಕಳುಹಿಸಬಾರದು ಎಂದು ನಿರ್ದೇಶಿಸಿದರು.
ಈ ಸಂದರ್ಭದಲ್ಲಿ ಜಿ.ಪಂ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಡಾ.ವಿಜಯ ಮಹಾಂತೇಶ ದಾನಮ್ಮನವರ್, ಕೋವಿಡ್ ನೋಡಲ್ ಅಧಿಕಾರಿ ಪ್ರಮೋದ್‍ನಾಯಕ್, ಆರ್.ಎಂ.ಒ ಡಾ.ಸಂಧ್ಯಾರಾಣಿ, ಹಿರಿಯ ತಜ್ಞ ಡಾ.ಅಣ್ಣಪ್ಪಸ್ವಾಮಿ, ಉಪ ವೈದ್ಯಕೀಯ ಅಧೀಕ್ಷಕ ಡಾ.ಚಿದಾನಂದ್, ಡಾ.ನಂದಿನಿ, ಡಾ.ಚಂದನ, ಡಾ.ಪ್ರಸನ್ನ, ಡಾ.ಅನಿತರಾಣಿ ಸೇರಿದಂತೆ ಹಿರಿಯ ತಜ್ಞರು ಉಪಸ್ಥಿತರಿದ್ದರು.
ಎಸ್.ಎಸ್.ಆಸ್ಪತ್ರೆಗೆ ಜಿಲ್ಲಾಧಿಕಾರಿಗಳ ಅನಿರೀಕ್ಷಿತ ಭೇಟಿ :
ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಇಎಸ್‍ಐ ಆಸ್ಪತ್ರೆಯಲ್ಲಿ ಪರಿಶೀಲನೆ ನಡೆಸಿದ ಬಳಿಕ ಅನಿರೀಕ್ಷಿತÀವಾಗಿ ಎಸ್.ಎಸ್.ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಆಸ್ಪತ್ರೆಯ ಎಂಐಸಿಯು, ಐಸೋಲೇಷನ್ ಹಾಗೂ ಐಸಿಯು ವಾರ್ಡ್‍ಗಳಿಗೆ ಭೇಟಿ ನೀಡಿ ಚಿಕಿತ್ಸೆ ಪಡೆಯುತ್ತಿದ್ದ ರೋಗಿಗಳ ಕುರಿತು ವೈದ್ಯರ ಬಳಿ ಮಾಹಿತಿ ಪಡೆದುಕೊಂಡರು.
ಎಸ್.ಎಸ್.ಆಸ್ಪತ್ರೆಯು ಕೋವಿಡ್ ಸೋಂಕಿತ ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ ನೀಡುತ್ತಿದ್ದು ಹೆಚ್ಚು ಸೋಂಕಿತರು ಗುಣಮುಖರಾಗುತ್ತಿದ್ದಾರೆ. ಗುಣಮುಖರಾದ ರೋಗಿಗಳನ್ನು ಆದಷ್ಟು ಬೇಗ ಬಿಡುಗೊಡೆಗೊಳಿಸಿ ಅಗತ್ಯವಿರುವ ಅಥವಾ ತುರ್ತು ಇರುವ ರೋಗಿಗಳಿಗೆ ಐಸಿಯು ಬೆಡ್‍ಗಳನ್ನು ನೀಡಬೇಕು. ಇಂದು ಐಸಿಎಂಆರ್ ಪೋರ್ಟಲ್‍ನಲ್ಲಿ 700 ಕ್ಕೂ ಹೆಚ್ಚು ಸೋಂಕಿತರು ಬರುವ ನಿರೀಕ್ಷೆ ಇದೆ. ಹಾಗಾಗಿ ಬೆಡ್ ವಿಸ್ತರಣೆ ಅನಿವಾರ್ಯವಾಗಿದ್ದು, ಆಸ್ಪತ್ರೆಯಲ್ಲಿ ಬೆಡ್, ಆಕ್ಸಿಜನ್ ಸೇರಿದಂತೆ ಎಲ್ಲಾ ಸವಲತ್ತುಗಳ ಸಾಮಥ್ರ್ಯವನ್ನು ಹೆಚ್ಚಿಸಿಕೊಳ್ಳಬೇಕು ಎಂದರು.
ಆಸ್ಪತ್ರೆಯಲ್ಲಿ ಆಕ್ಸಿಜನ್ ದುರ್ಬಳಕೆ ತಡೆಗಟ್ಟಲು ಆಕ್ಸಿಜನ್ ಆಡಿಟ್ ಮಾಡಿಸಲಾಗುತ್ತಿದ್ದು, ಇದರಿಂದ ಅನಗತ್ಯವಾಗಿ ಬಳಕೆಯಾಗುವ ಆಕ್ಸಿಜನ್ ಉಳಿಸಿ ಅಗತ್ಯವಿರುವವರಿಗೆ ಆಕ್ಸಿಜನ್ ನೀಡಬಹುದು. ಇದರಿಂದ ಎಸ್.ಎಸ್.ಆಸ್ಪತ್ರೆಯವರು ಕೂಡ ಪ್ರತಿನಿತ್ಯ ಆಕ್ಸಿಜನ್ ಆಡಿಟ್ ವರದಿಯನ್ನು ಜಿಲ್ಲಾಡಳಿತಕ್ಕೆ ವರದಿ ನೀಡಬೇಕು ಎಂದು ತಿಳಿಸಿದರು.
ಆಸ್ಪತ್ರೆಯ ಕೊಠಡಿಗಳು ಹಾಗೂ ಹೊರ ಆವರಣ ಸ್ವಚ್ಛತೆಯಿಂದ ಕೂಡಿದ್ದು ಎಲ್ಲಾ ವಾರ್ಡ್‍ಗಳನ್ನು ಆಗಾಗ ಸ್ಯಾನಿಟೈಸ್ ಮಾಡಬೇಕು. ಹಾಗೂ ಜಿಲ್ಲಾಸ್ಪತ್ರೆಯಿಂದ ರೆಫೆರ್ ಮಾಡಿದ ಕೋವಿಡ್ ಸೋಂಕಿತ ರೋಗಿಗಳನ್ನು ದಾಖಲು ಮಾಡಿಕೊಳ್ಳಬೇಕು ಎಂದರು.
ಈ ಸಂದರ್ಭದಲ್ಲಿ ಎಸ್.ಎಸ್.ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲರಾದ ಡಾ.ಪ್ರಸಾದ್, ವೈದ್ಯಕೀಯ ಅಧೀಕ್ಷಕ ಡಾ.ಕಾಳಪ್ಪನವರ್ ಸೇರಿದಂತೆ ಮತ್ತಿತರರು ಇದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನನ್ನ ನೆಚ್ಚಿನ ಪುಸ್ತಕ ವಿಮರ್ಶೆ ಸ್ಪರ್ಧೆ ; ವಿದ್ಯಾರ್ಥಿಗಳಿಗೆ ಬಹುಮಾನ
ಸುದ್ದಿದಿನ,ದಾವಣಗೆರೆ:ಪೂಜ್ಯ ಡಾ|| ಸದ್ಯೋಜಾತ ಶಿವಾಚಾರ್ಯ ಮಹಾಸ್ವಾಮಿಗಳವರ ಸ್ಮರಣಾರ್ಥ ಹಾಗೂ ಶಿಕ್ಷಕರ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ದಾವಣಗೆರೆ ಜಿಲ್ಲಾ ಮಟ್ಟದ “ನನ್ನ ನೆಚ್ಚಿನ ಪುಸ್ತಕ” ವಿಮರ್ಶೆ ಸ್ಪರ್ಧೆಯಲ್ಲಿ ಜಿಲ್ಲೆಯ ಹಲವಾರು ಪ್ರೌಢಶಾಲೆಯ ಮಕ್ಕಳು ಭಾಗವಹಿಸಿದ್ದರು.
ತೀರ್ಪುಗಾರರ ಮೆಚ್ಚುಗೆ ಪಡೆದ ಸಿದ್ಧಗಂಗಾ ಸಂಸ್ಥೆಯ ನಯಾಸ ಡಿ.ಎಸ್. ಪ್ರಥಮ ಬಹುಮಾನವಾಗಿ ಒಂದು ಸಾವಿರ, ದ್ವಿತೀಯ ಬಹುಮಾನ ಗಳಿಸಿದ ಜಾಹ್ನವಿ ರೂ. 750 ಮತ್ತು ತೃತೀಯ ಬಹುಮಾನ ಗಳಿಸಿದ ಚೈತನ್ಯ ವಿ. ಎಸ್. ರೂ. 500 ನಗದು ಬಹುಮಾನ ಪಡೆದರು. ಜೊತೆಗೆ ಈ ಮಕ್ಕಳಿಗೆ ಆಯೋಜಕರು ಸ್ಮರಣಿಕೆ, ಪ್ರಶಸ್ತಿಪತ್ರ ನೀಡಿ ಶಾಲು ಹೊದಿಸಿ ಸನ್ಮಾನಿಸಿದರು. ಎಳೆಯರ ಪ್ರಬುದ್ಧತೆಯನ್ನು ಶ್ಲಾಘಿಸಿದರು.
ಸಿದ್ಧಗಂಗಾ ವಿದ್ಯಾಸಂಸ್ಥೆಯ ಮುಖ್ಯಸ್ಥೆ ಜಸ್ಟಿನ್ ಡಿಸೌಜ ಅವರು ವಿಜೇತ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ವಿದ್ಯಾರ್ಥಿಗಳ ನಿರಂತರ ಪರಿಶ್ರಮ, ಶಿಕ್ಷಕರ ಮಾರ್ಗದರ್ಶನ ಪಾಲಕರ ಪ್ರೋತ್ಸಾಹ ಈ ಯಶಸ್ಸಿಗೆ ಕಾರಣವಾಗಿದೆ ಎಂದರು.
ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಪಠ್ಯಪುಸ್ತಕಗಳ ಜೊತೆಗೆ ಉತ್ತಮ ಕಾದಂಬರಿಗಳು, ಕಥಾಸಂಕಲನಗಳು, ಸಾಧಕರ ಆತ್ಮಕಥೆ ಕುರಿತಾದ ಪುಸ್ತಕಗಳನ್ನು ಓದುವ ಹವ್ಯಾಸ ಅತ್ಯಂತ ಮಹತ್ವದ್ದು, ಓದಿನ ಮೂಲಕ ಜ್ಞಾನ ವೃದ್ಧಿಯಾಗುವುದರ ಜೊತೆಗೆ ಚಿಂತನೆ, ವಿಶ್ಲೇಷಣೆ ಮತ್ತು ಅಭಿವ್ಯಕ್ತಿ ಸಾಮರ್ಥ್ಯವೂ ವೃದ್ಧಿಯಾಗುತ್ತದೆ. ವಿದ್ಯಾರ್ಥಿಗಳು ಮುಂದೆಯೂ ಇಂತಹ ಸಾಹಿತ್ಯಿಕ ಚಟುವಟಿಕೆಗಳಲ್ಲಿ ಸಕ್ರೀಯವಾಗಿ ಪಾಲ್ಗೊಂಡು ಹೆಚ್ಚಿನ ಸಾಧನೆ ಮಾಡಬೇಕು ಎಂದು ಶುಭ ಹಾರೈಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಚಿತ್ರದುರ್ಗ | ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಡಿ.ಡಿ ಬಿ.ಮಲ್ಲಿಕಾರ್ಜುನ, ಕ್ರೈಸ್ ಇ.ಡಿ ಬಿ.ಶಿವಸ್ವಾಮಿ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ಚಿತ್ರದುರ್ಗ: ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ವಸತಿ ಶಾಲೆಗಳಿಗೆ (ಕ್ರೈಸ್) ನಿಯಮಾನುಸಾರ ಆಹಾರ ಸಾಮಾಗ್ರಿಗಳನ್ನು ಸರಬರಾಜು ಮಾಡದೆ ವಂಚಿಸುತ್ತಿರುವ ಶ್ರೀ ಶಿರಡಿ ಪ್ರಾವಿಜನ್ ಸ್ಟೋರ್, ಚಿಕ್ಕಬಳ್ಳಾಪುರ ಇವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರಿದ ಚಿತ್ರದುರ್ಗ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಬಿ. ಮಲ್ಲಿಕಾರ್ಜುನ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಇದರ ಕಾರ್ಯನಿರ್ವಾಹಕ ನಿರ್ದೇಶಕರಾದ ಬಿ.ಶಿವಸ್ವಾಮಿ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ ವಸತಿ ಶಾಲೆಗಳಿಗೆ ಅಧಿಕೃತ ಟೆಂಡರುದಾರರಾದ ಶ್ರೀ ಶಿರಡಿ ಸಾಯಿ ಪ್ರಾವಿಜನ್ ಸ್ಟೋರ್, ಚಿಕ್ಕಬಳ್ಳಾಪುರ ಇವರು ನಿಯಮಾನುಸಾರ ಆಹಾರ ಸಾಮಾಗ್ರಿಗಳನ್ನು ವಿತರಣೆ ಮಾಡದೆ ಇರುವ ಅಧಿಕೃತ ಮಾಹಿತಿ ತಿಳಿದು, ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಚಿತ್ರದುರ್ಗ ಇವುಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳ ಪ್ರಾಂಶುಪಾಲರುಗಳಿAದ ಮಾಹಿತಿಹಕ್ಕು ಅಡಿಯಲ್ಲಿ ಪಡೆದ ದೃಢೀಕೃತ ದಾಖಲೆಗಳನ್ನು ಪರಿಶೀಲನೆ ಮಾಡಿದಾಗ ಆಹಾರ ಸಾಮಾಗ್ರಿ ಸರಬರಾಜಿನಲ್ಲಿ ಹಲವಾರು ಲೋಪದೋಷಗಳು ಕಂಡು ಬಂದಿರುತ್ತವೆ.
ಆದ ಕಾರಣ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಉಪ ನಿರ್ದೇಶಕರು, ಜಿಲ್ಲಾ ಸಮಾಜ ಕಲ್ಯಾಣ ನಾವು ದೂರು ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಯಾವುದೇ ಪ್ರತ್ಯುತ್ತರವನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ಇರುವ ಕಾರಣ ದಿನಾಂಕ: 21-04-2026 ರಂದು ಜ್ಞಾಪನವನ್ನು ನೀಡಲಾಗಿತ್ತು. ಆದರೆ ಜ್ಞಾಪನ ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಉಪ ನಿರ್ದೇಶಕರು, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ, ಚಿತ್ರದುರ್ಗ ದೂರು ಅರ್ಜಿಗೆ ಸಂಬAಧಿಸಿದAತೆ ತನಿಖಾ ವರದಿಯನ್ನಾಗಲಿ ಅಥವಾ ಪ್ರತ್ಯುತ್ತರವನ್ನಾಗಲಿ ನೀಡಿರುವುದಿಲ್ಲ.
ಈ ಬಗ್ಗೆ ಕಾರ್ಯನಿರ್ವಾಹಕ ನಿರ್ದೇಶಕರು, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಬೆಂಗಳೂರು ಇವರಿಗೆ ದೂರು ನೀಡಲಾಗಿತ್ತು. ಆದರೆ ಇವರು ಕೂಡ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಕರ್ತವ್ಯ ಲೋಪ ಎಸಗಿದ ಅಧಿಕಾರಿಗಳ ವಿರುದ್ದ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಾಳೆ ʼನಿರಾಕಾರ ವಿಶ್ವಕರ್ಮʼ ಕೃತಿ ಬಿಡುಗಡೆ
ಸುದ್ದಿದಿನ,ಬೆಂಗಳೂರು:ಕಾವ್ಯಸ್ಪಂದನ ಪ್ರಕಾಶನವು ಪ್ರಕಟಿಸಿರುವ ಪತ್ರಕರ್ತ, ಲೇಖಕ ಚಂದ್ರಶೇಖರ ಗಂಧನಹಳ್ಳಿ ಅವರ ʼನಿರಾಕಾರ ವಿಶ್ವಕರ್ಮʼ ಕೃತಿಯು ಸೆಪ್ಟೆಂಬರ್ 17ರಂದು ಬಿಡುಗಡೆಯಾಗಲಿದೆ. ಅಂದು ಬೆಳಗ್ಗೆ 10.30ಕ್ಕೆ ಮೈಸೂರು ಜಿಲ್ಲೆ, ಕೆ.ಆರ್.ನಗರ ತಾಲೂಕು ಆಡಳಿತ ಕಚೇರಿಯ ಸಭಾಂಗಣದಲ್ಲಿ ತಾಲೂಕು ಆಡಳಿತದ ಆಶ್ರಯ, ತಾಲೂಕು ವಿಶ್ವಕರ್ಮ ಸೇವಾ ಸಮಾಜ ಹಾಗೂ ತಾಲೂಕು ವಿಶ್ವಕರ್ಮ ಸಂಘದ ಜಂಟಿ ವತಿಯಿಂದ ಆಯೋಜಿಸಿರುವ ‘ವಿಶ್ವಕರ್ಮ ಜಯಂತಿ’ ಕಾರ್ಯಕ್ರಮದಲ್ಲಿ ಶಾಸಕರಾದ ಡಿ. ರವಿಶಂಕರ್ ಅವರು ಕೃತಿಯನ್ನು ಲೋಕಾರ್ಪಣೆ ಮಾಡಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಹಶೀಲ್ದಾರ್ ಜಿ. ಸುರೇಂದ್ರ ಮೂರ್ತಿ ಅವರು ವಹಿಸಲಿದ್ದಾರೆ. ತಾಲೂಕು ವಿಶ್ವಕರ್ಮ ಸೇವಾ ಸಮಾಜದ ಅಧ್ಯಕ್ಷ ರೇವಣ್ಣ, ತಾಲೂಕು ವಿಶ್ವಕರ್ಮ ಸಂಘದ ಅಧ್ಯಕ್ಷ ವೇಣುಗೋಪಾಲ್ ಎನ್., ಪದಾಧಿಕಾರಿಗಳಾದ ಈಶ್ವರಾಚಾರ್, ಚೇತನ್ ಮೂರ್ತಿ ಸೇರಿದಂತೆ ವಿಶ್ವಕರ್ಮ ಸಮುದಾಯದ ಮುಖಂಡರು ಹಾಗೂ ತಾಲೂಕು ಆಡಳಿತದ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ. ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಶ್ರೀ ಕಾಳಿಕಾಂಬಾ ದೇವಾಲಯದಲ್ಲಿ ವಿಶ್ವಕರ್ಮ ಜಯಂತಿ ಪ್ರಯುಕ್ತ ವಿಶೇಷ ಪೂಜೆ ನೆರವೇರಲಿದ್ದು, ಬಳಿಕ ಅಲ್ಲಿಂದ ತಾಲೂಕು ಆಡಳಿತ ಕಚೇರಿಯವರೆಗೆ ಮೆರವಣಿಗೆ ನಡೆಯಲಿದೆ.
ವಿಶೇಷವೆಂದರೆ, ಪ್ರಕಾಶಕರು ಹಾಗೂ ಆಯೋಜಕರ ಆಸಕ್ತಿಯ ಮೇರೆಗೆ ‘ನಿರಾಕಾರ ವಿಶ್ವಕರ್ಮ’ ಕೃತಿಯನ್ನು ತಿಂಗಳ ಅಂತರದಲ್ಲಿ ಮೂರು ಪ್ರತ್ಯೇಕ ಕಾರ್ಯಕ್ರಮಗಳಲ್ಲಿ ಬಿಡುಗಡೆ ಮಾಡಲಾಗುತ್ತಿದೆ. ಸೆಪ್ಟೆಂಬರ್ 17ರಂದು ಕೆ.ಆರ್.ನಗರದಲ್ಲಿ ಕೃತಿ ಬಿಡುಗಡೆಯಾದರೆ, ಸೆಪ್ಟೆಂಬರ್ 20ರಂದು ಬೆಂಗಳೂರಿನ ತಾತಗುಣಿಯ ವಿಶ್ವಕರ್ಮ ನಗರದಲ್ಲಿ ಕರ್ನಾಟಕ ರಾಜ್ಯ ವಿಶ್ವಕರ್ಮ ಮಹಾಮಂಡಳಿಯ ವತಿಯಿಂದ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ಕೃತಿ ಲೋಕಾರ್ಪಣೆಗೊಳ್ಳಲಿದೆ. ಹಾಗೆಯೇ, ನವೆಂಬರ್ 22ರಂದು ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಕಾವ್ಯಸ್ಪಂದನ ಪ್ರಕಾಶನ ಏರ್ಪಡಿಸಿರುವ ಕಾರ್ಯಕ್ರಮದಲ್ಲಿಯೂ ಈ ಕೃತಿ ಬಿಡುಗಡೆಯಾಗಲಿದೆ.
ಮಾನವ ನಾಗರಿಕತೆಯ ಇತಿಹಾಸವನ್ನು ತೆರೆದರೆ, ಅದರ ಪ್ರತಿಯೊಂದು ಪುಟದ ಹಿಂದೆಯೂ ಶ್ರಮಿಸಿದ ಅನಾಮಿಕ ಕೈಗಳು ಕಾಣಿಸುತ್ತವೆ. ಆ ಕೈಗಳು ಕಲ್ಲನ್ನು ಕೆತ್ತಿ ದೇವಸ್ಥಾನವಾಗಿಸಿವೆ, ಕಬ್ಬಿಣವನ್ನು ಬಡಿದು ಆಯುಧವಾಗಿಸಿವೆ, ಮರಕ್ಕೆ ರೂಪ ಕೊಟ್ಟು ಬಾಗಿಲಾಗಿಸಿವೆ, ಮಣ್ಣಿಗೆ ಜೀವ ತುಂಬಿ ಮಡಕೆಯಾಗಿಸಿವೆ; ಹಾಗೆಯೇ ಬಣ್ಣಗಳ ಮೂಲಕ ಅಚ್ಚಳಿಯದ ಭಾವನೆಗಳನ್ನು ಮೂಡಿಸಿವೆ. ಆ ಸೃಷ್ಟಿಶೀಲ ಕೈಗಳಿಗೆ ಬಹುಶಃ ಇತಿಹಾಸದ ಅಧಿಕೃತ ಪುಟಗಳಲ್ಲಿ, ರಾಜ-ಮಹಾರಾಜರ ಕಥೆಗಳ ನಡುವೆ ದೊಡ್ಡ ಅಕ್ಷರಗಳಲ್ಲಿ ಹೆಸರು ಸಿಕ್ಕಿಲ್ಲದಿರಬಹುದು. ಆದರೆ ಅವರು ನಿರ್ಮಿಸಿದ ಕಲೆ, ಶಿಲ್ಪ, ವಾಸ್ತು, ಉಪಕರಣ ಮತ್ತು ಸೌಂದರ್ಯವೇ ನಮ್ಮ ನಾಗರಿಕತೆಯ ಉಸಿರಾಗಿ, ಜೀವಂತ ಸಾಕ್ಷಿಗಳಾಗಿ ಇಂದಿಗೂ ಉಳಿದಿವೆ. ಅಂತಹ ಸೃಜನಶೀಲ ಕೈಗಳ ಸಮೂಹ ಸ್ಮೃತಿಯನ್ನು, ಪರಂಪರೆಯನ್ನು ಮತ್ತು ಇತಿಹಾಸವನ್ನು ಅರಿಯುವ ಅರ್ಥಪೂರ್ಣ ಪ್ರಯತ್ನವನ್ನು ನಿರಾಕಾರ ವಿಶ್ವಕರ್ಮ ಕೃತಿಯಲ್ಲಿ ಲೇಖಕರಾದ ಚಂದ್ರಶೇಖರ ಗಂಧನಹಳ್ಳಿ ಅವರು ಮಾಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243


