ದಿನದ ಸುದ್ದಿ
ದಾವಣಗೆರೆ | ಮುನಿಸಿಪಾಲಿಟಿ ಹಂತ-4 ರ ಯೋಜನೆಯಡಿ ಉಚಿತ ವೈಯಕ್ತಿಕ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ನಗರೋತ್ಥಾನ (ಮುನಿಸಿಪಾಲಿಟಿ) ಹಂತ-4 ಯೋಜನೆಯಡಿ ಶೇ 24.10, 7.25 ಮತ್ತು ಶೇ 5 ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ, ಅಲ್ಪಸಂಖ್ಯಾತ ವರ್ಗಗಳ ನಿರುದ್ಯೋಗಿ ಯುವತಿಯರಿಗೆ ಉಚಿತ ಹೊಲಿಗೆ ಯಂತ್ರ, ಮನೆ ಮೇಲ್ಛಾವಣಿ ದುರಸ್ಥಿಗೆ ಸಮಾಗ್ರಿಗಳ ಖರೀದಿಗೆ ಧನಸಹಾಯ, ಇತರೆ ಬಡ ವರ್ಗದ ಉದ್ದಿಮೆದಾರರಿಗೆ ಸಹಾಯಧನ ಮತ್ತು ದೈಹಿಕ ವಿಕಲಚೇತನರಿಗೆ ತ್ರಿಚಕ್ರ ವಾಹನ, ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ಗಳನ್ನು ನೀಡಲು ಅರ್ಹ ಫಲಾನುಭವಿಗಳಿಂದ ವೈಯಕ್ತಿಕ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹರು ಸೌಲಭ್ಯ ಪಡೆಯಲು ಪಾಸ್ಪೋರ್ಟ್ 2 ಭಾವಚಿತ್ರ, ಆಧಾರ್ ಕಾರ್ಡ್ ಜೆರಾಕ್ಸ್, ಚುನಾವಣಾ ಗುರುತಿನ ಚೀಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್ ಪ್ರತಿ , ಮನೆಯ ಇ-ಖಾತೆ ಜೆರಾಕ್ಸ್ ಪ್ರತಿ, ನಿವಾಸಿ ದೃಢೀಕರಣ, ವ್ಯಾಸಂಗ ಪ್ರಮಾಣ ಪತ್ರದೊಂದಿಗೆ ಜುಲೈ.15 ರೊಳಗಾಗಿ ಜಗಳೂರು ಪಟ್ಟಣ ಪಂಚಾಯಿತಿ ಕಾರ್ಯಾಲಯಕ್ಕೆ ಸಲ್ಲಿಸಲು ಮುಖ್ಯಾಧಿಕಾರಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಇಲಾಖೆಯ ಜಂಟಿ ನಿರ್ದೇಶಕ ರಮೇಶ್ ದೇಸಾಯಿ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ:ಪ್ರಾಚಾರ್ಯರು ಹಾಗೂ ಸಾರ್ವಜನಿಕ ಮಾಹಿತಿ ಅಧಿಕಾರಿಗಳು, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರ ಸಹಿಯನ್ನು ತನಿಖೆಗೆ ಒಳಪಡಿಸುವಂತೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದ ಹುಬ್ಬಳ್ಳಿಯ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಇಲಾಖೆಯ ಜಂಟಿ ನಿರ್ದೇಶಕರಾದ ರಮೇಶ್ ದೇಸಾಯಿ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ವಕೀಲ ಡಾ.ಕೆ.ಎ.ಓಬಳಪ್ಪ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇಲ್ಲಿ ಅಧ್ಯಯನ ಮಾಡಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಹಾಗೂ ಸರ್ಕಾರದಿಂದ ವಿತರಣೆಯಾದ ಟೂಲ್ಕಿಟ್ಗಳನ್ನು ನಿಯಮಾನುಸಾರ ವಿತರಣೆ ಮಾಡದೆ ವಂಚಿಸಿರುವ ಅಧಿಕೃತ ಮಾಹಿತಿಯ ಆಧಾರದ ಮೇಲೆ ಸಾರ್ವಜನಿಕ ಮಾಹಿತಿ ಅಧಿಕಾರಿಗಳು, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರಿಗೆ ಮಾಹಿತಿಹಕ್ಕು ಅರ್ಜಿ ಸಲ್ಲಿಸಿ, ಮಾಹಿತಿ ಕೋರಲಾಗಿತ್ತು.
ಪ್ರಾಚಾರ್ಯರು, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರು ನೀಡಿರುವ ಪತ್ರದಲ್ಲಿ ಫಾರ್ ಸಹಿಯೊಂದಿಗೆ ಹಿಂಬರಹ ನೀಡಲಾಗಿರುತ್ತದೆ. ಮಾಹಿತಿ ಅಧಿಕಾರಿ, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರು ನೀಡಿರುವ ಪತ್ರದಲ್ಲಿರುವ ಫಾರ್ ಸಹಿಯೇ ಪ್ರಾಚಾರ್ಯರ ಹೆಸರಿನ ಪತ್ರದಲ್ಲಿ ನಮೂದಾಗಿರುತ್ತದೆ. ಸದರಿ ಸಂಸ್ಥೆಯ ಸಾರ್ವಜನಿಕ ಮಾಹಿತಿ ಅಧಿಕಾರಿ ಪ್ರಾಚಾರ್ಯರೇ ಆಗಿರುತ್ತಾರೆ.
ಹೀಗಿರುವಾಗ ಪಾಚಾರ್ಯರ ಮುದ್ರೆ ಇರುವಲ್ಲಿ ಫಾರ್ ಎಂಬುದಾಗಿ ನಮೂದಿಸಿ ಸಹಿ ಮಾಡಿ, ಮಾಹಿತಿ ಅಧಿಕಾರಿ ಎಂಬ ಮುದ್ರೆಗೆ ಫಾರ್ ಬಳಸದೆ ಸಹಿ ಮಾಡಿರುವುದು ಹಲವು ಅನುಮಾನಕ್ಕೆ ಕಾರಣವಾಗಿ ಈ ಬಗ್ಗೆ ತನಿಖೆ ನಡೆಸುವಂತೆ ಜಂಟಿ ನಿರ್ದೇಶಕರಿಗೆ ದೂರು ನೀಡಲಾಗಿತ್ತು.
ಆದರೆ ಜಂಟಿ ನಿರ್ದೇಶಕರು, ಕೌಶಲ್ಯ ಅಭಿವೃದ್ದಿ ಮತ್ತು ಉದ್ಯೋಗ ಇಲಾಖೆ, ಹುಬ್ಬಳ್ಳಿ ಇವರಿಗೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ದೂರು ಅರ್ಜಿಗೆ ಸಂಬಂಧಿಸಿದಂತೆ ಯಾವುದೇ ಕ್ರಮ ಕೈಗೊಂಡ ಮಾಹಿತಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ದೂರು ನೀಡಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಚಿತ್ರದುರ್ಗ | ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಅಮರ್ನಾಥ್ ಜೈನ್ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ: 2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆ ಅಡಿಯಲ್ಲಿ ಚಿತ್ರದುರ್ಗ ಜಿಲ್ಲೆಯ 6 ತಾಲ್ಲೂಕುಗಳಿಗೆ ಬಿಡುಗಡೆಯಾದ ಅನುದಾನಕ್ಕೆ ಸಂಬಂಧಿಸಿದ ಕಾಮಗಾರಿಗಳನ್ನು ಇಲಾಖಾ ತನಿಖೆಗೆ ಒಳಪಡಿಸುವಂತೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ಇಲಾಖಾ ತನಿಖೆ ನಡೆಸದೆ ಕಾಲ ವಿಳಂಬ ಮಾಡುತ್ತಿರುವ ಚಿತ್ರದುರ್ಗ ಜಿಲ್ಲಾ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಅಭಿಯಂತರರಾದ ಅಮರ್ನಾಥ್ ಜೈನ್ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಅಧೀಕ್ಷಕರ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವೃತ್ತ, ದಾವಣಗೆರೆ ಇವರಿಗೆ 06 ಅರ್ಜಿ ಸಲ್ಲಿಸಿ, ಚಿತ್ರದುರ್ಗ ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ಉಪವಿಭಾಗಗಳಿಗೆ ಬಿಡುಗಡೆಯಾದ 2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆ ಅಡಿಯಲ್ಲಿ ಬಿಡುಗಡೆಯಾದ ಅನುದಾನಕ್ಕೆ ಸಂಬಂಧಿಸಿದ ಕಾಮಗಾರಿಗಳನ್ನು ಇಲಾಖಾ ತನಿಖೆಗೆ ಒಳಪಡಿಸುವಂತೆ ದೂರು ನೀಡಿದ್ದರು.
ಅಧೀಕ್ಷಕರ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವೃತ್ತ, ದಾವಣಗೆರೆ ಇವರು ಸದರಿ ಪ್ರಕರಣವನ್ನು ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇವರಿಗೆ ವರ್ಗಾಹಿಸಿದ್ದರು.
ನಿಯಮಾನುಸಾರ ಇಲಾಖೆ ತನಿಖೆ ನಡೆಸದೆ ಕಾಲ ವಿಳಂಬ ಮಾಡುವ ಉದ್ದೇಶದಿಂದ 6 ತಾಲ್ಲೂಕು ಉಪ ವಿಭಾಗಗಳಿಗೆ ಭೇಟಿ ನೀಡಿ ಮಾಹಿತಿ ಪಡೆಯುವಂತೆ ಆದೇಶ ಹೊರಡಿದ್ದು, ಇದರಂತೆ ವಕೀಲ ಡಾ.ಕೆ.ಎ.ಓಬಳಪ್ಪ ಇವರು ಎಲ್ಲಾ ಉಪವಿಭಾಗಗಳಿಗೆ ಭೇಟಿ ನೀಡಿ ದಾಖಲೆ ಪರಿಶೀಲನೆ ಮಾಡಿದಾಗ ದಾಖಲೆಗಳು ಕಛೇರಿಯಲ್ಲಿ ಲಭ್ಯವಿರುವುದಿಲ್ಲ.
ಈ ಬಗ್ಗೆ ಕಾರ್ಯಪಾಲಕ ಅಭಿಯಂತರರಿಗೆ ದೂರು ನೀಡಿದರೂ ನಿರ್ಲಕ್ಷö್ಯ ತೋರಿದ ಕಾರಣ, ಕರ್ತವ್ಯ ಲೋಪದ ಅಡಿಯಲ್ಲಿ ಕಾರ್ಯಪಾಲಕ ಅಭಿಯಂತರರಾದ ಅಮರ್ನಾಥ್ ಜೈನ್ ವಿರುದ್ಧ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿರುವುದಾಗಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಇಂಗ್ಲೀಶ್ ಪಠ್ಯಕ್ರಮ ಕಾರ್ಯಗಾರ
ಸುದ್ದಿದಿನ,ದಾವಣಗೆರೆ:ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಹಾಗೂ ದಾವಣಗೆರೆ ವಿಶ್ವವಿದ್ಯಾಲಯದ ಇಂಗ್ಲೀಷ್ ಪ್ರಾಧ್ಯಾಪಕರ ವೇದಿಕೆಯ (FODCET) ಸಂಯುಕ್ತ ಆಶ್ರಯದಲ್ಲಿ “ರಾಜ್ಯ ಶಿಕ್ಷಣ ನೀತಿ (S.E.P) ಇಂಗ್ಲೀಷ್ ಪಠ್ಯಕ್ರಮ” ಕುರಿತ ಒಂದು ದಿನದ ಕಾರ್ಯಗಾರವನ್ನು ದಿನಾಂಕ 02-03-2026 ರಂದು ಉದ್ಘಾಟಿಸಲಾಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಕರಿಬಸಪ್ಪ ನೆರವೇರಿಸಿದರು. ಮುಖ್ಯ ಅತಿಥಿಯಾಗಿ ದಾವಣಗೆರೆ ವಿಶ್ವವಿದ್ಯಾಲಯದ ಕಲಾ ನಿಕಾಯದ ಡೀನ್ ಡಾ. ಲೋಕೇಶ್ ಎಂ.ಯು. ಭಾಗವಹಿಸಿ, ಎಸ್.ಇ.ಪಿ ಪಠ್ಯಕ್ರಮದ ಉದ್ದೇಶ, ವಿನ್ಯಾಸ ಮತ್ತು ಪರಿಣಾಮಕಾರಿತ್ವದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಇಂಗ್ಲೀಷ್ ವಿಭಾಗದ ಸಂಯೋಜಕರಾದ ಡಾ. ಫಕ್ಕೀರೇಶ ಹಳ್ಳಳ್ಳಿ ಕಾರ್ಯಕ್ರಮದ ಉದ್ದೇಶವನ್ನು ವಿವರಿಸಿದರು.
ಈ ಕಾರ್ಯಗಾರದಲ್ಲಿ ದಾವಣಗೆರೆ ವಿಶ್ವವಿದ್ಯಾಲಯ ವ್ಯಾಪ್ತಿಯ ಎಲ್ಲಾ ಸರ್ಕಾರಿ, ಖಾಸಗಿ ಅನುದಾನಿತ ಹಾಗೂ ಅನುದಾನರಹಿತ ಪದವಿ ಕಾಲೇಜುಗಳಲ್ಲಿ ಇಂಗ್ಲೀಷ್ ಭಾಷೆ ಮತ್ತು ಸಾಹಿತ್ಯ ಬೋಧಿಸುವ ಪ್ರಾಧ್ಯಾಪಕರು ಭಾಗವಹಿಸಿ, ಪಠ್ಯಕ್ರಮದ ಅನುಷ್ಠಾನ, ಬೋಧನಾ ವಿಧಾನಗಳು ಹಾಗೂ ಮೌಲ್ಯಮಾಪನ ಕ್ರಮಗಳ ಕುರಿತು ವಿಚಾರ ವಿನಿಮಯ ನಡೆಸಿದರು.ಸ.ಪ್ರ.ದ. ಮಹಿಳಾ ಕಾಲೇಜಿನಲ್ಲಿ ಇಂಗ್ಲೀಷ್ ಪಠ್ಯಕ್ರಮ ಕುರಿತ ಮಹತ್ವದ ಕಾರ್ಯಗಾರ ಯಶಸ್ವಿ.
ವೇದಿಕೆಯಲ್ಲಿ ಪ್ರಾಧ್ಯಾಪಕರಾದ ಡಾ. ಜಯಪ್ಪ, ಡಾ. ಭೀಮಪ್ಪ, ಡಾ. ಮಹೇಶ್ ನಾಯ್ಕ್, ಡಾ.ಮಧುಸೂದನ್, ಡಾ. ವಿಜಯಕುಮಾರ್, ಡಾ. ನಾಗನಗೌಡ ಹಾಗೂ ಡಾ. ಶಿವರಾಜ್, ಡಾ. ತ್ರಿವೇಣಿ, ಡಾ. ಶಶಿಕಲಾ ಉಪಸ್ಥಿತರಿದ್ದರು.
ಐ ಕ್ಯೂ ಏ ಸಿ ಸಂಯೋಜಕರು ಮತ್ತು ಆಂಗ್ಲ ವಿಭಾಗದ ಮುಖ್ಯಸ್ಥರಾದ ಡಾ. ಭೀಮಪ್ಪ ಎಂ ಪಿ ಕಾರ್ಯಕ್ರಮದ ಕುರಿತು ಪ್ರಸ್ತಾಪಿಸಿ ಮತ್ತು ಸ್ವಾಗತಿಸಿದರು, ಇತಿಹಾಸ ವಿಭಾಗದ ಮುಖ್ಯಸ್ಥರು ವಂದಿಸಿದರು ಮತ್ತು ಪ್ರೂ. ಮಂಜುನಾಥ ಜಿ ಕಾರ್ಯಕ್ರಮವನ್ನು ನಿರೂಪಿಸಿದರು.
ಇಂಗ್ಲೀಷ್ ಮೇಜರ್ ನಲ್ಲಿ ರ್ಯಾಂಕ್ ಪಡೆದವಿದ್ಯಾರ್ಥಿನಿಯರನ್ನು ಇಂಗ್ಲಿಷ್ ವಿಭಾಗದಿಂದ ಸನ್ಮಾನಿಸಲಾಯಿತು. ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243


