Connect with us

ದಿನದ ಸುದ್ದಿ

ದಾವಣಗೆರೆ | ಲಾಕ್‍ಡೌನ್ ಜಿಲ್ಲೆಗೆ ಹೋಗುವುದು ಮತ್ತು ಬರುವುದು ಬೇಡ ; ಅಗತ್ಯ ಸೇವೆ ಹೊರತುಪಡಿಸಿ ಇತರೆ ಸೇವೆಗಳ ಬಂದ್ : ಜಿಲ್ಲಾಧಿಕಾರಿ

Published

on

ಸುದ್ದಿದಿನ,ದಾವಣಗೆರೆ : ಕೊರೊನಾ ವೈರಸ್ ಹರಡುವ ಸಾಧ್ಯತೆ ಹಿನ್ನೆಲೆಯಲ್ಲಿ ಯುಗಾದಿ ಹಬ್ಬವನ್ನು ತಾವು ಸದ್ಯ ಇರುವ ಸ್ಥಳದಲ್ಲೇ ಆಚರಿಸಬೇಕು. ಅನಗತ್ಯವಾಗಿ ಪರವೂರಿಗೆ, ನೆಂಟರ ಊರು ಎಂದು ತೆರಳಬಾರದು ಹಾಗೂ ಬೇರೆ ಜಿಲ್ಲೆಗಳಿಂದ ಸಹ ಯಾರೂ ದಾವಣಗೆರೆ ಜಿಲ್ಲೆಗೆ ಆಗಮಿಸಬಾರದು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಸಾರ್ವಜನಿಕರಿಗೆ ಸೂಚನೆ ನೀಡಿದರು.

ಇಂದು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಕೊರೊನಾ ವೈರಸ್ ನಿಯಂತ್ರಣ ಮತ್ತು ತಡೆ ಕುರಿತಾಗಿ ಅಧಿಕಾರಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಕೊರೊನಾ ವೈರಸ್ ಪಾಸಿಟಿವ್ ಪ್ರಕರಣಗಳಿದ್ದು ಲಾಕ್‍ಡೌನ್ ಆಗಿರುವ ಒಂಭತ್ತು ಜಿಲ್ಲೆಗಳ ನಾಗರೀಕರು ದಾವಣಗೆರೆ ಜಿಲ್ಲೆಗೆ ಹಬ್ಬ ಅಥವಾ ಇತರೆ ಕಾರಣಗಳಿಗೆ ಬರಬಾರದು ಎಂಬುದು ಎಸ್‍ಪಿ, ಸಿಇಓ ಹಾಗೂ ನಮ್ಮೆಲ್ಲರ ಒಕ್ಕೊರಲ ಮನವಿಯಾಗಿದೆ ಎಂದರು.

ಚೆಕ್‍ಪೋಸ್ಟ್ ಮೂಲಕ ನಿಗಾವಣೆ

ದಾವಣಗೆರೆ ಜಿಲ್ಲೆಗೆ ಲಾಕ್‍ಡೌನ್ ಆಗಿರುವ ಒಂಭತ್ತು ಜಿಲ್ಲೆಗಳಿಂದ ಬರುವ ವಾಹನಗಳನ್ನು ತಪಾಸಣೆ ಮಾಡಲಾಗುವುದು. ಇದಕ್ಕಾಗಿ ಜಿಲ್ಲೆಯಲ್ಲಿ ಅಗತ್ಯವಿರುವ ಕಡೆಗಳಲ್ಲಿ ಚೆಕ್‍ಪೋಸ್ಟ್‍ಗಳನ್ನು ಆರಂಭಿಸಲಾಗುವುದು. ಜಿಲ್ಲೆಗೆ ಬೇರೆ ಬೇರೆ ಊರುಗಳಿಂದ ಬರುವ ವಾಹನಗಳಲ್ಲಿನ ಜನರನ್ನು ತಪಾಸಣೆ(ಸ್ಕ್ರೀನಿಂಗ್) ಮಾಡಲಾಗುವುದು.

ಅವರಿಗೆ ಯಾವುದೇ ಸೋಂಕು ಇರುವುದು ಕಂಡು ಬಂದರೆ ಅಂತಹವರಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ನಿಗಾವಣೆಗೆ ಇರಿಸಲಾಗುವುದು. ಚೆಕ್‍ಪೋಸ್ಟ್‍ಗಳಲ್ಲಿ ಅರಣ್ಯ ಇಲಾಖೆ, ಆರೋಗ್ಯ ಇಲಾಖೆ ಮತ್ತು ಪೊಲೀಸ್ ಇಲಾಖೆಗಳ ಸಿಬ್ಬಂದಿಗಳನ್ನು ನಿಯೋಜಿಸಲಾಗುವುದು ಎಂದರು.

ಬಸ್ ಓಡಾಟ ರದ್ದು

ಲಾಕ್‍ಡೌನ್ ಆಗಿರುವ 9 ಜಿಲ್ಲೆಗಳಿಂದ ಓಡಾಡುವ ಖಾಸಗಿ ಬಸ್‍ಗಳನ್ನು ಸಹ ನಿಲ್ಲಿಸಲಾಗುವು. ಹಾಗೂ ಜಿಲ್ಲೆಯಿಂದ ಸಹ ಈ 9 ಜಿಲ್ಲೆಗಳಿಗೆ ಯಾವುದೇ ಬಸ್‍ಗಳು ಓಡಾಡಬಾರದಂತೆ ಕೆಎಸ್‍ಆರ್‍ಟಿಸಿ, ಆರ್‍ಟಿಓ ಅಧಿಕಾರಿಗಳು ಕ್ರಮ ವಹಿಸಬೇಕೆಂದು ಸೂಚನೆ ನೀಡಿದರು.

ಎಲ್ಲ ಅಧಿಕಾರಿಗಳ ಮೊದಲ ಆದ್ಯತೆ ಕೊರೊನಾ ನಿಯಂತ್ರಣ

ಎಲ್ಲ ಇಲಾಖೆಗಳ ಅಧಿಕಾರಿಗಳು ತಮ್ಮ ಕಚೇರಿ ಕೆಲಸಕ್ಕಿಂತ ಮುಖ್ಯವಾಗಿ ಮೊದಲನೇ ಆದ್ಯತೆಯಾಗಿ ಕೊರೊನಾ ವೈರಸ್ ನಿಯಂತ್ರಣದ ಕಾರ್ಯಗಳಲ್ಲಿ ಭಾಗಯಾಗಬೇಕು.

ಅಗತ್ಯ ಸೇವೆ ಹೊರತುಪಡಿಸಿ ಇತರೆ ಸೇವೆಗಳ ಬಂದ್

ಮೆಡಿಕಲ್ ಶಾಪ್, ಹಾಲು, ತರಕಾರಿ, ದಿನಸಿ ಅಂಗಡಿಗಳು, ಆಸ್ಪತ್ರೆಗಳು, ಪೆಟ್ರೋಲ್ ಬಂಕ್, ಕುಡಿಯುವ ನೀರಿನ ವ್ಯವಸ್ಥೆ, ಅಂಚೆ ಸೇವೆ, ಆಹಾರ, ಅಗ್ನಿಶಾಮಕ, ವಿದ್ಯುತ್ ಸೇರಿದಂತೆ ಅಗತ್ಯ ಸೇವೆಗಳನ್ನು ಹೊರತುಪಡಿಸಿ ಇನ್ನುಳಿದ ಎಲ್ಲಾ ವಾಣಿಜ್ಯ ಸೇವೆಗಳನ್ನು ಈ ಕ್ಷಣದಿಂದ ಸ್ಥಗಿತಗೊಳಿಸಲು ಆದೇಶಿಸಲಾಗುವುದು. ಬಾರ್ ಮತ್ತು ರೆಸ್ಟೋರೆಂಟ್, ಬಂಗಾರದ ಅಂಗಡಿ, ಬಟ್ಟೆ, ಪಾತ್ರೆ ಅಂಡಿಗಳು, ಹಾರ್ಡ್‍ವೇರ್ ಶಾಪ್‍ಗಳನ್ನು ಸ್ಥಗಿತಗೊಳಿಸಲಾಗಿದೆ ಎಂದರು.

ಆಹಾರ ಪಾರ್ಸೆಲ್‍ಗೆ ಅವಕಾಶ

ಹೋಟೆಲ್, ಕ್ಯಾಂಟಿನ್‍ಗಳಲ್ಲಿ ಕುಳಿತು ಊಟ ಮಾಡಲು ಅವಕಾಶ ಇಲ್ಲ. ಬದಲಾಗಿ ಪಾರ್ಸೆಲ್ ತೆಗೆದುಕೊಂಡು ಹೋಗಬಹುದು.

ಸುಳ್ಳುಸುದ್ದಿ ಹರಡಿದವರಿಗೆ ಕಠಿಣ ಕ್ರಮ

ಜಿಲ್ಲೆಯಲ್ಲಿ ಇದುವರೆಗೆ ಯಾವುದೇ ಕೊರೊನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿಲ್ಲ. ಆದರೆ ಜಿಲ್ಲೆಯಲ್ಲಿ ಕೊರೊನಾ ವೈರಸ್ ಪಾಸಿಟಿವ್ ಇದೆ ಎಂದು ಸುಳ್ಳುಸುದ್ದಿ ಹರಡುತ್ತಿದ್ದಾರೆಂಬ ವಿಷಯ ನನ್ನ ಗಮನಕ್ಕೆ ಬಂದಿದ್ದು, ಇಂತಹ ಸುಳ್ಳು ಸುದ್ದಿ ಹರಡಿಸುವವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಎಸ್‍ಪಿ ಹನುಮಂತರಾಯ ಮಾತನಾಡಿ, ಪಾಲಿಕೆ, ಆರ್‍ಟಿಓ, ಕೆಎಸ್‍ಆರ್‍ಟಿಸಿ ಹಾಗೂ ಸಿಜಿ ಆಸ್ಪತ್ರೆಯ ಸಿಬ್ಬಂದಿಗಳ ಕರ್ತವ್ಯ ನಿರ್ವಹಣೆಗೆ ಅನುಕೂಲವಾಗುವಂತೆ ಪೊಲೀಸ್ ಇಲಾಖೆಯ ಸಿಬ್ಬಂದಿಗಳನ್ನು ನೀಡಲಾಗುವುದು.

ವಿದೇಶಕ್ಕೆ ಹೋಗಿ ಬಂದು ಮನೆಯಲ್ಲಿ ಪ್ರತ್ಯೇಕವಾಗಿ ಅವಲೋಕನ ಅವಧಿಯಲ್ಲಿ ಇರಿಸಲಾಗಿರುವ ಮಾಹಿತಿಯನ್ನು ಪೊಲೀಸ್ ಇಲಾಖೆಗೆ ಪ್ರತಿ ದಿನ ನೀಡಬೇಕು. ನಮ್ಮ ನಿಯೋಜಿತ ಸಿಬ್ಬಂದಿಗಳು ಅಂತವರನ್ನು ಮನೆಯಲ್ಲೇ ಇರುವಂತೆ ನಿಗಾ ವಹಿಸುವರು. ಹಾಗೂ ಅವರ ಮನೆ ಮುಂದೆ ಕೊರೊನಾ ವೈರಸ್ ಜಾಗೃತಿ ಬಗ್ಗೆ ಭಿತ್ತಿಚಿತ್ರ ಅಂಟಿಸಲಾಗುವುದು. ಅವರು ಹೊರಗೆ ಹೋಗುವುದರಿಂದ ತೊಂದರೆ ಆಗುವ ಹಿನ್ನೆಲೆಯಲ್ಲಿ ವಿದೇಶಕ್ಕೆ ಹೋಗಿ ಬಂದವರು ಕಡ್ಡಾಯವಾಗಿ ಅವಲೋಕನ ಅವಧಿಯನ್ನು ಪೂರ್ಣಗೊಳಿಸಬೇಕು ಎಂದರು.

ಜಿಲ್ಲಾಧಿಕಾರಿಗಳು, ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಆರೋಗ್ಯ, ಕಂದಾಯ, ಸ್ಥಳೀಯ ಸಂಸ್ಥೆಗಳು, ಪಾಲಿಕೆ, ಆರ್‍ಟಿಓ, ಕೆಎಸ್‍ಆರ್‍ಟಿಸಿ ಸೇರಿದಂತೆ ನಿಗಾವಣೆಗಾಗಿ ನಿಯೋಜಿಸಲಾಗಿರುವ 6 ತಂಡಗಳು ಸಕ್ರಿಯವಾಗಿ ಕಾರ್ಯ ನಿರ್ವಹಿಸಬೇಕು. ದಾಖಲಾತಿಗಳನ್ನು ನಿಖರವಾಗಿ ನಿರ್ವಹಿಸಬೇಕು ಎಂದರು.

ಲಾಕ್‍ಡೌನ್ ಬಗ್ಗೆ ಚಿಂತನೆ

ದಾವಣಗೆರೆ ಜಿಲ್ಲೆಯು ಸರ್ಕಾರ ಲಾಕ್‍ಡೌನ್ ಮಾಡಿರುವ ಜಿಲ್ಲೆಗಳಿಗೆ ಗಡಿಯಾಗಿರುವುದರ ಹಿನ್ನೆಲೆ ಹಾಗೂ ಸಾರ್ವಜನಿಕರು ಇಂದು ನಡೆದ ಫೋನ್‍ಇನ್ ಕಾರ್ಯಕ್ರಮದಲ್ಲಿ ಜಿಲ್ಲೆಯಲ್ಲಿ ಪಾಸಿಟಿವ್ ಪ್ರಕರಣ ವರದಿಯಾಗುವವರೆಗೆ ಕಾಯದೇ ಮುನ್ನೆಚ್ಚರಿಕಾ ಕ್ರಮವಾಗಿ ಇಂದಿನಿಂದಲೇ ಲಾಕ್‍ಡೌನ್ ಮಾಡಬೇಕೆಂದು ಮನವಿ ಮಾಡಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಇಂದಿನಿಂದಲೇ ಲಾಕ್‍ಡೌನ್ ಮಾಡುವ ಬಗ್ಗೆ ಚಿಂತಿಸಲಾಗುವುದು ಎಂದ ಅವರು, ಲಾಕ್‍ಡೌನ್ ಮಾಡುವವರೆಗೆ ಕಾಯದೇ ವ್ಯಾಪಾರಸ್ಥರು, ವಾಣಿಜ್ಯ ಅಂಗಡಿಗಳ ಮಾಲೀಕರು ಸ್ವಯಂ ಬಂಧ್ ಮಾಡಬೇಕೆಂದರು.

ವಾರ್ಡುವಾರು ಕೈತೊಳೆಯುವ ಪಾಯಿಂಟ್

ಕೊರೊನಾ ಸೋಂಕು ಮುನ್ನೆಚ್ಚರಿಕೆ ಕ್ರಮವಾಗಿ ನಗರದ 45 ವಾರ್ಡುಗಳು ಸೇರಿದಂತೆ ಇತರೆ ಸ್ಥಳೀಐ ಸಂಸ್ಥೆಗಳು ಸೇರಿ ಒಟ್ಟು 158 ಪಾಯಿಂಟ್‍ಗಳಲ್ಲಿ ಸ್ಯಾನಿಟೈಸರ್/ಸಾಬೂನಿನಿಂದ ‘ಕೈ ತೊಳೆಯುವ ಕೇಂದ್ರ’ ಗಳನ್ನು ಮೊದಲನೇ ಹಂತದಲ್ಲಿ 15 ದಿನಗಳ ಕಾಲ ತೆರೆಯಲಾಗುವುದು. ಇಲ್ಲಿ ಸಾರ್ವಜನಿಕರು ಆಗಾಗ ಕೈ ತೊಳೆಯುವ ಮೂಲಕ ಸ್ವಚ್ಚತೆಯನ್ನು ಕಾಪಾಡಿಕೊಳ್ಳಬಹುದು ಎಂದರು.

ಎಟಿಎಂ ಸ್ಯಾನಿಟೈಸರ್ ಕಡ್ಡಾಯ

ಎಲ್ಲ ಎಟಿಎಂ ಗಳಲ್ಲಿ ಸ್ಯಾನಿಟೈಸರ್‍ಗಳನ್ನು ಕಡ್ಡಾಯವಾಗಿ ಇಡಬೇಕು. ಸ್ಯಾನಿಟೈಸರ್ ಇಡದೇ ಇರುವ ಎಟಿಎಂನ ಬ್ಯಾಂಕುಗಳಿಗೆ ನೋಟಿಸ್ ನೀಡಲಾಗುವುದು.

ಎನ್-95 ಅವಶ್ಯಕತೆ ಇಲ್ಲ

ಚಿಗಟೇರಿ ಜಿಲ್ಲಾ ಆಸ್ಪತ್ರೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮೆಡಿಕಲ್ ವಿದ್ಯಾರ್ಥಿಗಳು ಇದುವರೆಗೂ ಎನ್-95 ಮಾಸ್ಕ್ ಲಭ್ಯವಾಗಿಲ್ಲ ಹಾಗಾಗಿ ಕರ್ತವ್ಯ ನಿರ್ವಹಿಸಲು ಕಷ್ಟ ಎಂದು ದೂರಿರುವ ಹಿನ್ನೆಲೆಯಲ್ಲಿ, ಜಿಲ್ಲಾಧಿಕಾರಿಗಳು ವಿದ್ಯಾರ್ಥಿಗಳಿಗೆ ಕರ್ತವ್ಯ ನಿರ್ವಹಿಸಲು ಎನ್-95 ಮಾಸ್ಕ್ ಬೇಕೆಂದಿಲ್ಲ. ಬದಲಾಗಿ ಟ್ರಿಪಲ್ ಲೇಯರ್ ಮಾಸ್ಕ್ ಸಾಕು.

ಸರ್ಕಾರದ ಆದೇಶದ ಅನ್ವಯ ಎಲ್ಲೆಡೆಯೂ ಎನ್-95 ಮಾಸ್ಕ್ ಅವಶ್ಯಕವಲ್ಲ. ಬದಲಾಗಿ ಐಸಿಯು ಹಾಗೂ ಐಸೋಲೇಷನ್ ವಾರ್ಡ್‍ಗಳಲ್ಲಿ ಅದರ ಅವಶ್ಯಕತೆ ಇದೆಯಷ್ಟೇ. ವಿದ್ಯಾರ್ಥಿಗಳಿಗೆ ಈ ಕುರಿತು ಯಾವುದೇ ಆತಂಕ ಬೇಡ. ಇದನ್ನು ಅರಿತು ಕರ್ತವ್ಯ ನಿರ್ವಹಿಸುವುದರೊಂದಿಗೆ ಜಿಲ್ಲಾಡಳಿತಕ್ಕೆ ಸಹಕರಿಸಬೇಕು. ಅದರಂತೆ ಅವಶ್ಯಕವಾಗಿರುವ ಸ್ಯಾನಿಟೈಸರ್ ಮತ್ತು ಮಾಸ್ಕ್‍ಗಳ ಕೊರತೆ ಬರದಂತೆ ನೋಡಿಕೊಳ್ಳಬೇಕು ಎಂದು ವೈದ್ಯಾಧಿಕಾರಿಗಳಿಗೆ ಸೂಚಿಸಿದರು.ತಾಲ್ಲೂಕುಗಳಿಂದ ಬರುವ ಖಾಸಗಿ ಬಸ್‍ಗಳಲ್ಲಿ ಯದ್ವಾತದ್ವ ಜನರನ್ನು ತುಂಬಿಸುವುದು ಸೂಕ್ತವಲ್ಲ. ಈ ಬಗ್ಗೆ ಆರ್‍ಟಿಓ ಕ್ರಮ ವಹಿಸಬೇಕೆಂದರು ಹೇಳಿದರು.

ಬಸ್ ವ್ಯವಸ್ಥೆ ಇಲ್ಲದ ಕಡೆ ಆಟೋದವರು ಸಾರ್ವಜನಿಕರಿಂದ ದುಪ್ಪಟ್ಟು ಹಣ ಕೇಳುತ್ತಿರುವುದು ಗಮನಕ್ಕೆ ಬಂದಿದ್ದು, ಇದನ್ನು ಈಗಲೇ ನಿಲ್ಲಿಸಬೇಕೆಂದು ಸೂಚಿಸಿದರು.

ಪೊಲೀಸ್ ಇಲಾಖೆಯ ಸಹಾಯ ಪಡೆದು ಪಾಲಿಕೆಯ ಆರೋಗ್ಯ ನಿರೀಕ್ಷಕರು, ಅಂಗಡಿ, ಬಾರ್, ರೆಸ್ಟೋರೆಂಟ್ ಸೇರಿದಂತೆ ವಾಣಿಜ್ಯ ಮಳಿಗೆಗಳನ್ನು ಎಲ್ಲೆಡೆ ಮುಚ್ಚಿಸಬೇಕು ಎಂದ ಅವರು ಜಿಲ್ಲೆಯಲ್ಲಿ ಎಲ್ಲ ಕ್ವಾರಿಗಳನ್ನು ಸಹ ಇಂದಿನಿಂದಲೇ ಬಂದ್ ಮಾಡಬೇಕು ಎಂದು ಸೂಚಿಸಿದರು.

ಹಕ್ಕಿಜ್ವರ

ಜಿಲ್ಲಾಧಿಕಾರಿಗಳು, ಎಲ್ಲ ಕೋಳಿ ಫಾರಂಗಳನ್ನು ಸ್ವಚ್ಚಗೊಳಿಸುವ ಕೆಲಸ ಆಗಬೇಕು. ಸ್ವಚ್ಚತೆ ಮಾಡಿಸದೇ ಇರುವ ಫಾರ್ಮ್‍ಗಳನ್ನು ಶಾಶ್ವತವಾಗಿ ನಿಲ್ಲಿಸಲಾಗುವುದು ಎಂದರು.

ಸಭೆಯಲ್ಲಿ ಜಿ.ಪಂ.ಸಿಇಓ ಪದ್ಮಾ ಬಸವಂತಪ್ಪ, ಅಪರ ಜಿಲ್ಲಾಧಿಕರಿ ಪೂಜಾರ ವೀರಮಲ್ಲಪ್ಪ, ಪಾಲಿಕೆ ಆಯುಕ್ತ ವಿಶ್ವನಾಥ ಮುದಜ್ಜಿ, ಕೆಎಸ್‍ಆರ್‍ಟಿಸಿ ಡಿಸಿ ಸಿದ್ದೇಶ್, ಆರ್‍ಟಿಓ ಎನ್.ಜೆ.ಬಣಕಾರ್, ಡಿಹೆಚ್‍ಓ ಡಾ.ರಾಘವೇಂದ್ರಸ್ವಾಮಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ರಾಘವನ್ ಇತರೆ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ

ದೇವನಗರಿ ಸುದ್ದಿದಿನ – ದೀಪಾವಳಿ ವಿಶೇಷ ಸಂಚಿಕೆ 2026 : ಕತಾ ಸ್ಪರ್ಧೆ ; ಅನಂತ ಕುಣಿಗಲ್ ಅವರ ಸಂಸ‌ ಕತೆ ಪಡೆದ ಪ್ರಥಮ ಸ್ಥಾನ ಅಮಾನ್ಯ ; ಪರಿಷ್ಕೃತ ಫಲಿತಾಂಶ ‌ಪ್ರಕಟ

Published

on

ಸುದ್ದಿದಿನ,ದಾವಣಗೆರೆ:ದೇವನಗರಿ ಸುದ್ದಿದಿನ – ದೀಪಾವಳಿ ವಿಶೇಷ ಸಂಚಿಕೆ 2026ರ ಕತಾ ಸ್ಪರ್ಧೆಯ ನಿಯಮಾವಳಿಯನ್ನು ಉಲಂಘಿಸಿರುವ ಕಾರಣ ಅನಂತ ಕುಣಿಗಲ್ ಅವರ ಸಂಸ‌ ಕತೆ ಪಡೆದ ಪ್ರಥಮ ಸ್ಥಾನವನ್ನು ಅಮಾನ್ಯ ಮಾಡಲಾಗಿದೆ ಎಂದು ಪತ್ರಿಕೆಯ ಸಂಪಾದಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕತೆ-ಕವಿತೆ ಸ್ಪರ್ಧೆಯ ನಿಯಮಾವಳಿಗಳ ಪ್ರಕಾರ ‘ “ಸ್ವತಂತ್ರ ರಚನೆಯಾಗಿರ ಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು” ಎನ್ನುವ ನಿಯಮಾವಳಿಗಳನ್ನು ಉಲಂಘಿಸಿರುವುದರಿಂದ ಪ್ರಥಮ ಸ್ಥಾನ ಪಡೆದ ” ಸಂಸ” ಕತೆಯನ್ನು ಅಮಾನ್ಯಗೊಳಿಸಲಾಗಿದೆ.

‘ಸಂಸ’ ಕತೆಯ ಕತೆಗಾರರಾದ ಅನಂತ ಕುಣಿಗಲ್ ಅವರು
ಸ್ವತಃ ತಮ್ಮ ಫೇಸ್ ಬುಕ್ ವಾಲ್ ನಲ್ಲಿ ‘ ಸಂಸ’ ಕತೆಯು ಈ ಹಿಂದೆ ಯಾವುದೋ ಕತಾ ಸ್ಪರ್ಧೆಯಲ್ಲಿ ಸಮಾಧಾನಕರ ಬಹುಮಾನ ಪಡೆದಿತ್ತು. ಮತ್ತೊಂದೆಡೆ ತೃತೀಯ, ಮಗದೊಂದೆಡೆ ದ್ವಿತೀಯ ಬಹುಮಾನ ಲಭಿಸಿತ್ತು, ಅಲ್ಲದೆ ‘ಟೋಟೋ’ ಅವಾರ್ಡ್ ನ ಅಂತಿಮ ಸುತ್ತಿಗೆ ಎರಡು ಬಾರಿ ಶಾರ್ಟ್ ಲಿಸ್ಟ್ ಆಗಿತ್ತು ಎಂದು ಬರೆದು ಕೊಂಡಿರುತ್ತಾರೆ. ಆದಕಾರಣ ಈ ಕ್ರಮವನ್ನು ಕೈಗೊಳ್ಳಲಾಗಿದೆ.

ಕತಾ ಸ್ಪರ್ಧೆಯ ಪರಿಷ್ಕೃತ ಫಲಿತಾಂಶ

ಕತಾ ಸ್ಪರ್ಧೆಯಲ್ಲಿ ರವಿಮುಡೋಡಿ ಅವರ ʼಅರ್ಧ ರೇಖೆಯ ಚಿತ್ರʼ  ಕತೆಗೆ ಪ್ರಥಮ ಬಹುಮಾನ, ವಿಜಯ ಶ್ರೀ ಹಾಲಾಡಿ ಅವರ ʼಮಳೆಹಾಡುʼ ಕತೆಗೆ ದ್ವಿತೀಯ ಬಹುಮಾನ ಹಾಗೂ ಅಜೇಯ ಸಿಂಹ ಕೆ.ವಿ ಅವರ ‘ ಮಾರ್ಜಕದ ಶ್ರೀಮುಡಿ’ ಕತೆಗೆ  ತೃತೀಯ ಬಹುಮಾನ ದೊರೆತಿದೆ ಎಂದು ಸುದ್ದಿದಿನ ಪತ್ರಿಕೆ ಸಂಪಾದಕ ಮಾಹಿತಿ ನೀಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದೇವನಗರಿ ಸುದ್ದಿದಿನ ಪತ್ರಿಕೆಯ ದೀಪಾವಳಿ ವಿಶೇಷಾಂಕ- 2026 ರ ಕತೆ – ಕವಿತೆ ಫಲಿತಾಂಶ ಪ್ರಕಟ

Published

on

ಸುದ್ದಿದಿನ,ದಾವಣಗೆರೆ:ದೇವನಗರಿ ಸುದ್ದಿದಿನ ಹಾಗೂ ಶ್ಯಾಮ್‌ ಪ್ರಕಾಶನ, ನವಿಲೇಹಾಳು ವತಿಯಿಂದ ದೀಪಾವಳಿ ವಿಶೇಷಾಂಕ-2026 ರ ಕತೆ ಮತ್ತು ಕವಿತೆ ಸ್ಪರ್ಧೆಯ ಫಲಿತಾಂಶ ಪ್ರಕಟವಾಗಿದ್ದು, ಕತಾ ಸ್ಪರ್ಧೆಯಲ್ಲಿ ಅನಂತ್‌ ಕುಣಿಗಲ್‌ ಅವರ ́ಸಂಸʼ ಕತೆಗೆ ಪ್ರಥಮ ಬಹುಮಾನ,. ರವಿ ಮಡೋಡಿ ಅವರ ʼಅರ್ಧ ರೇಖೆಯ ಚಿತ್ರʼ ಕತೆಗೆ ದ್ವಿತೀಯ ಬಹುಮಾನ ಹಾಗೂ ವಿಜಯ ಶ್ರೀ ಹಾಲಾಡಿ ಅವರ ʼಮಳೆಹಾಡುʼ ಕತೆಗೆ  ತೃತೀಯ ಬಹುಮಾನ ದೊರೆತಿದೆ ಎಂದು ಸುದ್ದಿದಿನ ಪತ್ರಿಕೆ ಸಂಪಾದಕರಾದ ಗೋವರ್ಧನ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಜೇಯ ಸಿಂಹ ಕೆ.ವಿ. ಅವರ ʼಮಾರ್ಜಕದ ಶ್ರೀಮುಡಿʼ, ಟಿ.ಆರ್.‌ ಪ್ರಕಾಶ ಭಾಗವತ ಅವರ ʼಸಮಾಧಿʼ , ರಘುನಂದನ್‌ ಅವರ ʼಹೀಗೊಂದು ಕಛೇರಿʼ , ಡಾ||. ಮಿರ್ಜಾ ಬಷೀರ್‌ ಅವರ ʼ ಒಂದು ಸದ್ದಿಲ್ಲದ ಕ್ರಾಂತಿʼ, ಸುಜಾತ ಎಸ್.‌ ಎನ್‌ ರೆಡ್ಡಿ ಅವರ ʼ ಸತ್ಯ ದರ್ಶನʼ, ಚಂದ್ರಿಕಾ ನಾಗರಾಜ್‌ ಹಿರಿಯಡಕ  ಅವರ ʼ ವೆಂಕಟನ ಸ್ವೆಟರ್, ರೈಹಾನ ಅವರ  ʼಬಾವಿಗೆ ಬಿದ್ದರೂʼ, ಒಟ್ಟು ಈ  ಏಳುಕತೆಗಳು ತೀರ್ಪುಗಾರ ಮೆಚ್ಚುಗೆ ಪಡೆದಿವೆ.

ಕತಾ ಸ್ಪರ್ಧೆಯ ತೀರ್ಪುಗಾರರಾಗಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಕತೆಗಾರ ಹಾಗೂ ನಿವೃತ್ತ ಪ್ರಾಧ್ಯಾಪಕ ಅಮರೇಶ ನುಗಡೋಣಿ, ಹೊಸಪೇಟೆ, ಕವಿ ಕತೆಗಾರ , ಜಿ. ಮುದ್ದುವೀರಸ್ವಾಮಿ, ದಾವಣಗೆರೆ, ಕತೆಗಾರ್ತಿ ಹಾಗೂ ಕನ್ನಡ ಪ್ರಾಧ್ಯಾಪಕಿ, ಸುಜಾತ ಚಲಾವಾದಿ, ತಾಳಿಕೋಟೆ, ಕತೆಗಾರ ಹಾಗೂ ಅಕ್ಷರ ಸಂಗಾತ ಮಾಸ ಪತ್ರಿಕೆಯ ಸಂಪಾದಕ ಡಾ. ಟಿ ಎಸ್‌. ಗೊರವರ, ಗಜೇಂದ್ರಘಡ ಇವರು ಕಾರ್ಯನಿವಹಿದ್ದರು ಎಂದು ಮಾಹಿತಿ ನೀಡಿದ್ಧಾರೆ.

ಪ್ರಥಮ ಬಹುಮಾನ ಹತ್ತು ಸಾವಿರ ರೂ (10000 ರೂ ) ನಗದು, ದ್ವೀತೀಯ ಬಹುಮಾನ ಐದು ಸಾವಿರ ನಗದು, (5000 ರೂ), ತೃತೀಯ ಬಹುಮಾನ ಮೂರು ಸಾವಿರ (3000) ರೂ ನಗದು ಹಾಗೂ ಪ್ರಮಾಣ ಪತ್ರವನ್ನು ಬಹುಮಾನಿತರಿಗೆ ನೀಡಲಾಗುವುದು.

ಕವಿತೆ ಸ್ಪರ್ಧೆ ಫಲಿತಾಂಶ

ಕವಿತೆ ಸ್ಪರ್ಧೆಯಲ್ಲಿ ಆನಂದ ಕುಂಚನೂರ ಅವರ ʼ ಬೆತ್ತಲೆ ಶಿಖರʼ ಕವಿತೆಗೆ ಪ್ರಥಮ ಬಹುಮಾನ, ಅಜಯ್‌ ಅಂಗಡಿ ಅವರ ʼಒಂದು ಶ್ರಾವಣ ಸಂಜೆಗೆʼ ದ್ವಿತೀಯ ಬಹುಮಾನ, ಭಾಗ್ಯ ಜ್ಯೋತಿ ಹಿರೇಮಠ ಅವರ ʼ ಗೋಡೆ ಕವಿತೆಗೆ ತೃತೀಯ ಬಹುಮಾನ ದೊರೆತಿದೆ.

ಫೈಜ್ನಟ್ರಾಜ್‌ ಅವರ ʼಅವ್ವ ತಟ್ಟಿದ ರೊಟ್ಟಿಯಲ್ಲಿ ಬೆರಳಿನ ಗುರುತುʼ, ಹೊನ್ನಪ್ಪ. ನೀ. ಕರೆಕನ್ನಮ್ಮನವರ ಅವರ ʼಒಂಟಿಯಾನದ ಸರಕುʼ, ಕವಿತ ಎ.ವಿ ಅವರ ʼಬಂದಿದ್ದಾರೆ ಸಿಕ್ಕಿಲ್ಲʼ, ರಮ್ಯ ಕೆ.ಜಿ. ಅವರ ʼಬಿಡಿಸಿಕೊಳ್ಳುತ್ತದೊಂದು ಚಿತ್ರ,ʼ, ಮುರ್ತುಜಾ ಬೇಗಂ ಕೊಡಗಲಿ ಅವರ ʼಒಂದು ಕನ್ನಡಿ ಮೂರು ಬಿಂಬಗಳುʼ, ಮನಸ್ವಿ ಎಂ ಸ್ವಾಮಿ ಅವರ ʼ ರಾಜಧಾನಿಯಲ್ಲಿ ರಾಜʼ, ವೀಣಾ ರಾವ್ ಅವರ  ʼಬಣ್ಣಗಳ ಆಚೆಗೆʼ ಒಟ್ಟು ಏಳು ಕವಿತೆಗಳು ತೀರ್ಪುಗಾರರ ಮೆಚ್ಚುಗೆ ಪಡೆದಿವೆ.

ಕವಿತೆ ಸ್ಪರ್ಧೆಯ ತೀರ್ಪುಗಾರರಾಗಿ ಕವಿ ಚಂದ್ರಶೇಖರ ತಾಳ್ಯ, ಹೊಳಲ್ಕೆರೆ, ಕವಯಿತ್ರಿ ಸವಿತಾ ನಾಗಭೂಷಣ, ಶಿವಮೊಗ್ಗ, ಕವಿ ವಿಲ್ಸನ್‌ ಕಟೀಲು ಅವರು ಕಾರ್ಯನಿರ್ವಹಿಸಿದ್ದರು.

ಪ್ರಥಮ ಬಹುಮಾನ ಐದು ಸಾವಿರ ರೂ (5000 ರೂ ) ನಗದು, ದ್ವೀತೀಯ ಬಹುಮಾನ ಮೂರು ಸಾವಿರ ನಗದು, (3000 ರೂ), ತೃತೀಯ ಬಹುಮಾನ ಎರಡು ಸಾವಿರ (2000) ರೂ ನಗದು ಹಾಗೂ ಪ್ರಮಾಣ ಪತ್ರವನ್ನು ಬಹುಮಾನಿತರಿಗೆ ಇದೇ ಅಕ್ಟೋಬರ್‌ 24 ರಂದು ದಾವಣಗೆರೆಯ ಕುವೆಂಪು ಕನ್ನಡ ಭವನದಲ್ಲಿ ʼ ನಡೆಯುವ ದೀಪಾವಳಿ ವಿಶೇಷಾಂಕ-2026 ರ ಬಿಡುಗಡೆ ಕಾರ್ಯಕ್ರಮದಲ್ಲಿ  ನೀಡಿ ಗೌರವಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ: 9980346243 ಸಂಪರ್ಕಿಸಲು ಈ ಮೂಲಕ ತಿಳಿಸಲಾಗಿದೆ.

Continue Reading

ದಿನದ ಸುದ್ದಿ

ನನ್ನ ನೆಚ್ಚಿನ ಪುಸ್ತಕ ವಿಮರ್ಶೆ ಸ್ಪರ್ಧೆ ; ವಿದ್ಯಾರ್ಥಿಗಳಿಗೆ ಬಹುಮಾನ

Published

on

ಸುದ್ದಿದಿನ,ದಾವಣಗೆರೆ:ಪೂಜ್ಯ ಡಾ|| ಸದ್ಯೋಜಾತ ಶಿವಾಚಾರ್ಯ ಮಹಾಸ್ವಾಮಿಗಳವರ ಸ್ಮರಣಾರ್ಥ ಹಾಗೂ ಶಿಕ್ಷಕರ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ದಾವಣಗೆರೆ ಜಿಲ್ಲಾ ಮಟ್ಟದ “ನನ್ನ ನೆಚ್ಚಿನ ಪುಸ್ತಕ” ವಿಮರ್ಶೆ ಸ್ಪರ್ಧೆಯಲ್ಲಿ ಜಿಲ್ಲೆಯ ಹಲವಾರು ಪ್ರೌಢಶಾಲೆಯ ಮಕ್ಕಳು ಭಾಗವಹಿಸಿದ್ದರು.

ತೀರ್ಪುಗಾರರ ಮೆಚ್ಚುಗೆ ಪಡೆದ ಸಿದ್ಧಗಂಗಾ ಸಂಸ್ಥೆಯ ನಯಾಸ ಡಿ.ಎಸ್.‌ ಪ್ರಥಮ ಬಹುಮಾನವಾಗಿ ಒಂದು ಸಾವಿರ, ದ್ವಿತೀಯ ಬಹುಮಾನ ಗಳಿಸಿದ ಜಾಹ್ನವಿ ರೂ. 750 ಮತ್ತು ತೃತೀಯ ಬಹುಮಾನ ಗಳಿಸಿದ ಚೈತನ್ಯ ವಿ. ಎಸ್‌. ರೂ. 500 ನಗದು ಬಹುಮಾನ ಪಡೆದರು. ಜೊತೆಗೆ ಈ ಮಕ್ಕಳಿಗೆ ಆಯೋಜಕರು ಸ್ಮರಣಿಕೆ, ಪ್ರಶಸ್ತಿಪತ್ರ ನೀಡಿ ಶಾಲು ಹೊದಿಸಿ ಸನ್ಮಾನಿಸಿದರು. ಎಳೆಯರ ಪ್ರಬುದ್ಧತೆಯನ್ನು ಶ್ಲಾಘಿಸಿದರು.

ಸಿದ್ಧಗಂಗಾ ವಿದ್ಯಾಸಂಸ್ಥೆಯ ಮುಖ್ಯಸ್ಥೆ ಜಸ್ಟಿನ್‌ ಡಿಸೌಜ ಅವರು ವಿಜೇತ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ವಿದ್ಯಾರ್ಥಿಗಳ ನಿರಂತರ ಪರಿಶ್ರಮ, ಶಿಕ್ಷಕರ ಮಾರ್ಗದರ್ಶನ ಪಾಲಕರ ಪ್ರೋತ್ಸಾಹ ಈ ಯಶಸ್ಸಿಗೆ ಕಾರಣವಾಗಿದೆ ಎಂದರು.

ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಪಠ್ಯಪುಸ್ತಕಗಳ ಜೊತೆಗೆ ಉತ್ತಮ ಕಾದಂಬರಿಗಳು, ಕಥಾಸಂಕಲನಗಳು, ಸಾಧಕರ ಆತ್ಮಕಥೆ ಕುರಿತಾದ ಪುಸ್ತಕಗಳನ್ನು ಓದುವ ಹವ್ಯಾಸ ಅತ್ಯಂತ ಮಹತ್ವದ್ದು, ಓದಿನ ಮೂಲಕ ಜ್ಞಾನ ವೃದ್ಧಿಯಾಗುವುದರ ಜೊತೆಗೆ ಚಿಂತನೆ, ವಿಶ್ಲೇಷಣೆ ಮತ್ತು ಅಭಿವ್ಯಕ್ತಿ ಸಾಮರ್ಥ್ಯವೂ ವೃದ್ಧಿಯಾಗುತ್ತದೆ. ವಿದ್ಯಾರ್ಥಿಗಳು ಮುಂದೆಯೂ ಇಂತಹ ಸಾಹಿತ್ಯಿಕ ಚಟುವಟಿಕೆಗಳಲ್ಲಿ ಸಕ್ರೀಯವಾಗಿ ಪಾಲ್ಗೊಂಡು ಹೆಚ್ಚಿನ ಸಾಧನೆ ಮಾಡಬೇಕು ಎಂದು ಶುಭ ಹಾರೈಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending