ದಿನದ ಸುದ್ದಿ
ದಾವಣಗೆರೆ | 120 ಕೋಟಿ ವೆಚ್ಚದಲ್ಲಿ ನೂತನ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣ ನಿರ್ಮಾಣ : ಸಂಸದ ಜಿ.ಎಂ.ಸಿದ್ದೇಶ್ವರ
ಸುದ್ದಿದಿನ, ದಾವಣಗೆರೆ : ಸ್ಮಾರ್ಟ್ ಸಿಟಿ ಯೋಜನೆಯ ರೂ.90 ಕೋಟಿ ಹಾಗೂ ಸಾರಿಗೆ ಇಲಾಖೆಯ ರೂ.30 ಕೋಟಿ ಒಟ್ಟು ರೂ.120 ಕೋಟಿ ಮೊತ್ತದಲ್ಲಿ ನೂತನ ಹೈಟೆಕ್ ಬಸ್ ನಿಲ್ದಾಣ ನಿರ್ಮಿಸಲಾಗುವುದು ಎಂದು ಸಂಸದ ಜಿ.ಎಂ.ಸಿದ್ದೇಶ್ವರ ಹೇಳಿಿದರು.
ಲೋಕಸಭಾ ಕ್ಷೇತ್ರದ ಸಂಸದರಾದ ಜಿ.ಎಂ.ಸಿದ್ದೇಶ್ವರ್ ಕೆ ಎಸ್ ಆರ್ ಟಿ ಸಿ ನೂತನ ಬಸ್ ನಿಲ್ದಾಣದ ಶಂಕುಸ್ಥಾಪನೆಯನ್ನು ಸೋಮವಾರ ನೆರೆವೇರಿಸಿ ಮಾತನಾಡಿ, ಜೋರು ಮಳೆ ಬಂದರೆ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದಲ್ಲಿ ನೀರು ತುಂಬಿ ಅವ್ಯವಸ್ಥೆ ಆಗುತ್ತಿತ್ತು. ಬಸ್ ನಿಲ್ದಾಣದಲ್ಲಿ ವ್ಯವಸ್ಥಿತ ಪಾರ್ಕಿಂಗ್, ಶಾಪಿಂಗ್ ಕಾಂಪ್ಲೆಕ್ಸ್, ಸಿನೆಮಾ ಥಿಯೇಟರ್ ಸೇರಿದಂತೆ ಅತ್ಯಾಧುನಿಕ ವ್ಯವಸ್ಥೆಗಳು ಇರಲಿವೆ. 2 ವರ್ಷಗಳ ಅವಧಿಯಲ್ಲಿ ಗುತ್ತಿಗೆದಾರರು ಅಚ್ಚುಕಟ್ಟಾಗಿ, ಶಾಶ್ವತವಾಗಿ ಉಳಿಯುವಂತೆ ಉತ್ತಮ ಗುಣಮಟ್ಟದೊಂದಿಗೆ ನಿರ್ಮಿಸಿಕೊಡಬೇಕು ಎಂದರು.
ಸ್ಮಾರ್ಟ್ ಸಿಟಿ ಯೋಜನೆಯಡಿ ನಗರದಲ್ಲಿ ಅನೇಕ ಕೆಲಸಗಳು ನಡೆಯುತ್ತಿವೆ. ಹೈಟೆಕ್ ರೈಲ್ವೇ ನಿಲ್ದಾಣ, ರೂ.35 ಕೋಟಿ ವೆಚ್ಚದಲ್ಲಿ ಸಿಆರ್‍ಸಿ, ಉತ್ತಮ ರಸ್ತೆಗಳು, ಬೀದಿ ದೀಪ ವ್ಯವಸ್ಥೆ ಮಾಡಲಾಗಿದೆ. ಹಾಗೂ ಯುವಜನತೆಗೆ ಉದ್ಯೋಗಾವಕಾಶ ಕಲ್ಪಿಸಲು ಸಾಫ್ಟ್‍ವೇರ್ ಟೆಕ್ನಾಲಜಿ ಪಾರ್ಕ್ ಆಫ್ ಇಂಡಿಯಾಗೆ ಶೀಘ್ರದಲ್ಲೇ ಚಾಲನೆ ನೀಡಲಾಗುವುದು. ಜೊತೆಗೆ ರೂ.5 ಕೋಟಿ ವೆಚ್ಚದಲ್ಲಿ ಎಸಿ ಕಚೇರಿ ನಿರ್ಮಿಸಲು ಒಪ್ಪಿಗೆ ದೊರೆತಿದೆ.
ದಾವಣಗೆರೆಯನ್ನು ಅತ್ಯುತ್ತಮ ಜಿಲ್ಲೆಯನ್ನಾಗಿಸುವುದು ನನ್ನ ಕನಸಾಗಿದ್ದು ಇದನ್ನು ಸಾಕಾರಗೊಳಿಸಲು ಶಾಸಕರು, ಸಚಿವರು ಮತ್ತು ಮುಖ್ಯಮಂತ್ರಿಗಳು ಸಹಕರಿಸುತ್ತಿದ್ದು, ಮುಂದೆಯೂ ಹೀಗೆಯೇ ಕೈಹಿಡಿಯುತ್ತಾರೆಂಬ ಭರವಸೆ ಇದೆ ಎಂದರು.
ಹೈಸ್ಕೂಲ್ ಮೈದಾನದಲ್ಲಿ ತಾತ್ಕಾಲಿಕ ಬಸ್ ನಿಲ್ದಾಣಕ್ಕೆ ಇಂದು ಚಾಲನೆ ನೀಡಿದ್ದು ಅಲ್ಲಿ ನಿರಪಯುಕ್ತ ಬಸ್‍ನಲ್ಲಿ ಮಹಿಳೆಯರಿಗೆ ಮೊಬೈಲ್ ಶೌಚಾಲಯ ನಿರ್ಮಿಸಿರುವುದು ಅತ್ಯುತ್ತಮವಾಗಿದ್ದು ಈ ಕೆಲಸ ಶ್ಲಾಘನೀಯವಾಗಿದೆ ಎಂದ ಅವರು ಉತ್ತಮ ಸೇವೆಗಾಗಿ ಬೆಳ್ಳಿ ಪದಕ ಪಡೆದವರ ಜವಾಬ್ದಾರಿ ಇನ್ನೂ ಹೆಚ್ಚಿದ್ದು, ಎಲ್ಲರೂ ಶ್ರದ್ದೆಯಿಂದ ಕರ್ತವ್ಯ ನಿರ್ವಹಿಸಬೇಕೆಂದರು.
ನಗರಾಭಿವೃದ್ದಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ ಬಸವರಾಜ ಚಾಲಕರಿಗೆ ಬೆಳ್ಳಿ ಪದಕ ವಿತರಣೆ ಮಾಡಿ ಮಾತನಾಡಿ, ಇಂದು ಸಂತೋಷದ ದಿನವಾಗಿದ್ದು, ಇಡೀ ರಾಜ್ಯದಲ್ಲೇ ದಾವಣಗೆರೆಯ ಬಸ್ ನಿಲ್ದಾಣ ಮಾದರಿ ಆಗಬೇಕು. ಆ ರೀತಿಯಲ್ಲಿ ಗುತ್ತಿಗೆದಾರರು ಮತ್ತು ಅಧಿಕಾರಿಗಳು ಶ್ರದ್ದೆಯಿಂದ ನಿಗದಿತ ಸಮಯದೊಳಗೆ ಕೆಲಸ ಮಾಡಬೇಕೆಂದು ಸೂಚಿಸಿದ ಅವರು ಸಂಸದರ ಪ್ರಯತ್ನದಿಂದ ಸ್ಮಾರ್ಟ್‍ಸಿಟಿ ಯೋಜನೆಯಡಿ ಅತ್ಯಾಧುನಿಕ ಬಸ್ ನಿಲ್ದಾಣ ಕಾರ್ಯ ಆರಂಭವಾಗಿದ್ದು, ಅವರು ಪ್ರತಿ ತಾಲ್ಲೂಕುಗಳ ಬಗ್ಗೆ ಗಮನ ಹರಿಸಿ ಮಾಡಿಸುತ್ತಿದ್ದಾರೆ ಎಂದರು.
ಬಸ್ ಚಾಲಕರ ಕೈಯಲ್ಲಿ ಎಲ್ಲ ಪ್ರಯಾಣಿಕರ ಪ್ರಾಣ ಇರುತ್ತದೆ. ಆದ ಕಾರಣ ನಿರ್ಲಕ್ಷ್ಯ ವಹಿಸದೇ, ಜಾಗ್ರತೆಯಿಂದ ತಮ್ಮ ಕರ್ತವ್ಯ ನಿರ್ವಹಿಸಬೇಕು ಎಂದ ಅವರು ಎಲ್ಲರೂ ಪ್ರಾಮಾಣಿಕವಾಗಿ ಕೆಲಸ ಮಾಡಿದಲ್ಲಿ ಸಂಸ್ಥೆಯನ್ನು ಅಭಿವೃದ್ದಿಯತ್ತ ಕೊಂಡಯ್ಯಲು ಸಾಧ್ಯ ಎಂದರು.
ಕ.ರಾ.ರ.ಸಾ ನಿಗಮದ ಅಧ್ಯಕ್ಷರು ಹಾಗೂ ಹೊಳಲ್ಕೆರೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಚಂದ್ರಪ್ಪ ಮಾತನಾಡಿ, ಜಿಲ್ಲೆಯ ಸಂಸದರಾದ ಜಿ.ಎಂ ಸಿದ್ದೇಶ್ವರವರ ಪ್ರಯತ್ನ ಮತ್ತು ಒತ್ತಾಸೆಯಂತೆ ಇಂದು ನಗರದಲ್ಲಿ ರೂ.120 ಕೋಟಿಯಲ್ಲಿ ಸುಸಜ್ಜಿತ ಬಸ್‍ನಿಲ್ದಾಣ ನಿರ್ಮಾಣಕ್ಕೆ ಶಂಕುಸ್ಥಾಪನೆಯಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರೂ ಜಿಲ್ಲೆಯಲ್ಲಿ ಉತ್ತಮವಾಗಿ ಕೆಲಸಗಳನ್ನು ಕೈಗೊಳ್ಳುತ್ತಿದ್ದಾರೆ.
ಸಂಸ್ಥೆಯಲ್ಲಿ ಡೀಸೆಲ್‍ಗೂ ಹಣ ಇಲ್ಲದಂತಹ ಕಷ್ಟ ಕಾಲದಲ್ಲಿ, ಬಸ್‍ಗಳು ಓಡಾಡಲು ಕಷ್ಟಕರವಾಗಿದ್ದ ಸಂದರ್ಭದಲ್ಲಿ ಸಾರಿಗೆ ಸಚಿವರು ಸರ್ಕಾರದ ಮನವೊಲಿಸಿ 1780 ಕೋಟಿ ಅನುದಾನವನ್ನು ತಂದರು. ಆದರೆ ಕಳೆದ ಮಾಹೆಯ 11 ಮತ್ತು 12 ನೇ ತಾರೀಕಿನಂದು ಇಲಾಖೆಯ ನೌಕರರು ಏಕಾಏಕಿ ಪ್ರತಿಭಟನೆ ಆರಂಭಿಸಿದಿರಿ. ಸುಮಾರು 1.30 ಲಕ್ಷ ನೌಕರರಿರುವ ಒಂದು ತಿಂಗಳಿಗೆ ವೇತನ ನೀಡಲು ಸುಮಾರು 300 ಕೋಟಿ ಅವಶ್ಯಕತೆ ಇರುವ ಸಂಸ್ಥೆಯ ಕಷ್ಟಗಳೆಲ್ಲ ತಿಳಿದಿದ್ದ ನೀವು ಸರ್ಕಾರಕ್ಕೆ ಬೆಲೆ ಕೊಡುವ ಕೆಲಸ ಮಾಡಬೇಕಿತ್ತು ಎಂದರು.
ಇಲಾಖೆ ನಷ್ಟದಲ್ಲಿದ್ದರೂ ಸಾರ್ವಜನಿಕರಿಗೆ ತೊಂದರೆಯಾಗಬಾರದೆಂಬ ಒಂದೇ ಕಾರಣಕ್ಕೆ ಬಸ್‍ಗಳನ್ನು ಓಡಿಸುತ್ತಿದ್ದೇವೆ. 30 ಸಾವಿರ ಬಸ್ ಗಳ ಪೈಕಿ 20 ಸಾವಿರ ಬಸ್‍ಗಳನ್ನು ಓಡಿಸುತ್ತಿದ್ದು 10 ಸಾವಿರ ಬಸ್‍ಗಳು ಗ್ಯಾರೇಜ್‍ನಲ್ಲಿ ನಿಂತಿವೆ. ಇಷ್ಟೆಲ್ಲ ಸಮಸ್ಯೆಗಳ ನಡುವೆ ಪ್ರತಿಭಟನೆ ನಡೆಸಿದಿರಿ. ಮುಂದಿನ ದಿನಗಳಲ್ಲಿ ಹೀಗೆ ಮಾಡಿದರೆ ಸಂಸ್ಥೆಯನ್ನೇ ಕಳೆದುಕೊಳ್ಳಬೇಕಾದ ಪರಿಸ್ಥಿತಿ ಬರುಬಹುದೆಂದು ಸೂಚ್ಯವಾಗಿ ಹೇಳುತ್ತಿದ್ದೇನೆ ಎಂದ ಅವರು ನೌಕರರೆಲ್ಲರೂ ಇದು ನಮಗೋಸ್ಕರ ಇರುವ ಸಂಸ್ಥೆ ಎಂಬ ಮನೋಭಾವ ಹೊಂದಬೇಕೆಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | 18 ನೇ ವಾರ್ಡ್ ನಲ್ಲಿ ಕೈ ಅಭ್ಯರ್ಥಿ ಸಮರ್ಥ ಶಾಮನೂರು ಪ್ರಚಾರ
ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಸಮರ್ಥ್ ಶಾಮನೂರು ಅವರು ಮಂಗಳವಾರ 18 ನೇ ವಾರ್ಡ್ ವ್ಯಾಪ್ತಿಯಲ್ಲಿ ಅಬ್ಬರ ಪ್ರಚಾರ ನಡೆಸಿದರು.
ನಗರದ ಬಾರ್ ಲೈನ್ ದರ್ಗಕ್ಕೆ ತೆರಳಿ ಚಾದರ ಅರ್ಪಿಸಿದ ಸಮರ್ಥ ಶಾಮನೂರು ಅವರಿಗೆ ಮುಸ್ಲಿಂ ಸಮಾಜದ ಬಾಂಧವರು ಆತ್ಮೀಯವಾಗಿ ಸನ್ಮಾನಿಸಿದರು. ಬಳಿಕ ಅಲ್ಲಿಂದ ಪ್ರಚಾರವನ್ನು ಆರಂಭಿಸಿದ ಅವರು ಎಂ.ಬಿ ಕೇರಿ, ಮಟನ್ ಮಾರ್ಕೇಟ್, ಗಡಿಯಾರ ಕಂಬ, ಸ್ವಾಗೇರ್ ಪೇಟೆ, ಹೊಂಡದ ರಸ್ತೆ, ಕಾಯಿಪೇಟೆಯ ಮನೆ ಮನೆಗೆ ತೆರಳಿ ಮತಯಾಚಿಸಿದರು.
ಕಾಂಗ್ರೆಸ್ ಪಕ್ಷದ ಮುಖಂಡರಾದ ನರಸಿಂಹಪ್ಪ, ರವಿಕುಮಾರ್, ಕಾಶಿನಾಥ್ ಅವರ ಮನೆಗೆ ಅಭ್ಯರ್ಥಿ ಸಮರ್ಥ ಶಾಮನುರು ಅವರು ಭೇಟಿ ನೀಡಿದಾಕ್ಷಣ ಕುಟುಂಬಸ್ಥರು ದಿವಂಗತರಾದ ಡಾ.ಶಾಮನೂರು ಶಿವಶಂಕರಪ್ಪ ಅವರನ್ನು ನೆನೆದು ಭಾವುಕರಾದರು. ಶಾಮನೂರು ಸಮರ್ಥ ಅವರಿಗೆ ದಕ್ಷಿಣ ಕ್ಷೇತ್ರದಲ್ಲಿ ಪ್ರಚಂಡ ಬಹುಮತವನ್ನು ನೀಡಿ ಗೆಲ್ಲಿಸುತ್ತೇವೆ ಎಂದು ಮತದಾರರು ಅಭಿಪ್ರಾಯ ವ್ಯಕ್ತಪಡಿಸಿದರು.
ಸ್ಥಳೀಯ ಮುಖಂಡರಾದ ಚಂದ್ರ ಶೇಖರ್, ಸೋಗಿ ಶಾಂತಕುಮಾರ್, ಪ್ರವೀಣ್ ರಾವ್, ಬಕ್ಕೇಶ್, ಪರಮೇಶ್, ಜಯರಾಜ್, ಹನುಮಂತ್, ರಾಘವೇಂದ್ರ, ಭೀಮಣ್ಣ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಕರ್ನಾಟಕ ಜಾಹೀರಾತು ನೀತಿಗೆ ಸಂಪಾದಕರ ವಿರೋಧ ; ಸಿಎಂಗೆ ಮನವಿ
ನೀತಿಯನ್ನು ಪರಿಶೀಲಿಸುವ ಭರವಸೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಸುದ್ದಿದಿನ,ದಾವಣಗೆರೆ: ಕರ್ನಾಟಕ ಜಾಹೀರಾತು ನೀತಿ-2026 ರಲ್ಲಿ ಪತ್ರಿಕೆಗಳಿಗೆ ಮಾರಕವಾದ ನಿಯಮಗಳನ್ನು ಕೈಬಿಡುವಂತೆ ಕೋರಿ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ದಾವಣಗೆರೆ ಜಿಲ್ಲಾ ವರದಿಗಾರರ ಕೂಟದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸೋಮವಾರ ಮಧ್ಯಾಹ್ನ ನಗರದ ಎಂ.ಬಿ.ಎ ಗ್ರೌಂಡ್ ಹೆಲಿಪ್ಯಾಡ್ ನಲ್ಲಿ ಮನವಿ ಸಲ್ಲಿಸಲಾಯಿತು.
ರಾಜ್ಯದಲ್ಲಿ ಜಾರಿಗೆ ತರಲು ಹೊರಟಿರುವ ಕರ್ನಾಟಕ ಜಾಹೀರಾತು ನೀತಿ-2026 ಜಿಲ್ಲಾ ಮಟ್ಟದ ಮತ್ತು ಪ್ರಾದೇಶಿಕ ಮಟ್ಟದ ಪತ್ರಿಕೆಗಳಿಗೆ ಮಾರಕವಾಗಿದ್ದು,ಇದರಿಂದ ಶತಶತಮಾನಗಳಿಂದ ಸಮಾಜದ ಮತ್ತು ಸರ್ಕಾರದ ಕೊಂಡಿಯಾಗಿ ಸೇವೆ ಮಾಡುತ್ತಿರುವ ಪತ್ರಿಕೆಗಳು ಮುಚ್ಚುತ್ತವೆ. ಯಾವುದೇ ಕಾರಣಕ್ಕೂ ಪತ್ರಿಕೆಗಳಿಗೆ ಮಾರಕವಾಗುವ ನಿಯಮಗಳನ್ನು ಅಳವಡಿಸದೇ ಪತ್ರಿಕೆಗಳ ಏಳಿಗೆಗೆ ಪೂರಕವಾದ ಅಂಶಗಳನ್ನು ಸೇರಿಸಿ ಕರ್ನಾಟಕ ಜಾಹೀರಾತು ನೀತಿಯನ್ನು ಜಾರಿಗೆ ತರಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ , ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರಿಗೆ ಮನವರಿಕೆ ಮಾಡಿಕೊಡಲಾಯಿತು.
ಸಂಘಗಳ ಮನವಿ ಸ್ವೀಕರಿಸಿದ ಮುಖ್ಯಮಂತ್ರಿಗಳು ಜಾಹೀರಾತು ನೀತಿ ಪರಿಶೀಲಿಸುವ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘದ ರಾಜ್ಯಾಧ್ಯಕ್ಷರಾದ ಎ.ಸಿ.ತಿಪ್ಪೇಸ್ವಾಮಿ, ಜಿಲ್ಲಾ ಘಟಕದ ಅಧ್ಯಕ್ಷರಾದ ಸುರೇಶ್ ಆರ್ ಕುಣೆಬೆಳಕೆರೆ, ಖಜಾಂಜಿ ಶಿವಮೂರ್ತಿ ಟಿ.ಜಿ , ರಾಜ್ಯ ಸಂಘದ ನಾಮನಿರ್ದೇಶನ ಸದಸ್ಯ ಕೆ.ಜೈಮುನಿ ಮತ್ತು
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಅಧ್ಯಕರಾದ ಇ.ಎಂ.ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಬದ್ರಿನಾಥ್, ಖಜಾಂಚಿ ಜೆ.ಎಸ್.ವೀರೇಶ್ ಹಾಗೂ ದಾವಣಗೆರೆ ಜಿಲ್ಲಾ ವರದಿಗಾರರ ಕೂಟದ ಅಧ್ಯಕ್ಷರಾದ ನಾಗರಾಜ ಬಡದಾಳ್ , ಹಿರಿಯ ಪತ್ರಕರ್ತರಾದ ಕೆ.ಏಕಾಂತಮ್ಮ, ಬಿ.ಎನ್.ಮಲ್ಲೇಶ್, ಮಲ್ಲಿಕಾರ್ಜುನ ಕಬ್ಬೂರು, ಆರ್.ಎಸ್.ತಿಪ್ಪೇಸ್ವಾಮಿ, ಕೊಟ್ರೇಶ್ ಅಣಬೂರುಮಠ, ನಿಂಗಪ್ಪ, ಗೋವಿಂದ ರಾಜು, ಫಕೃದ್ದೀನ್, ಆರ್.ರವಿ,ಬಿ.ವಾಸುದೇವ, ರಾಘವೇಂದ್ರ ರಾವ್, ವೇದಮೂರ್ತಿ,ನಿಂಗಪ್ಪ, ಪರಶುರಾಮ, ನಂದಕುಮಾರ್ ಮುಂತಾದವರು ಇದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಹರಿಹರ ನಗರಸಭೆಯು 04 ಸಂಖ್ಯಾತಿರಿಕ್ತ ಪೌರಕಾರ್ಮಿಕರ ಹುದ್ದೆಗಳನ್ನು ವಿಶೇಷ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಪ್ರಸ್ತುತ ಹರಿಹರ ನಗರಸಭೆಯಲ್ಲಿ ಕೆಲಸ ನಿರ್ವಹಿಸುತ್ತಿರುವವರು ಹಾಗೂ ಈ ನಿಯಮ ಜಾರಿಗೆ ಬಂದ ದಿನಾಂಕದಲ್ಲಿಯೂ ಸದರಿ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಮಾರ್ಚ್ 11 ರಿಂದ ಅರ್ಜಿಗಳನ್ನು ಪಡೆದುಕೊಳ್ಳಬಹುದು.
ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಏಪ್ರಿಲ್ 10 ಕಡೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಅರ್ಜಿಗಳನ್ನು ಹರಿಹರ ನಗರಸಭೆ ಕಚೇರಿಯಿಂದ ಮಾತ್ರ ಪಡೆದುಕೊಳ್ಳಬೇಕು. ಹುದ್ದೆಗಳ ವರ್ಗೀಕರಣ, ಷರತ್ತುಗಳು, ವಯೋಮಿತಿ ಮತ್ತು ಅಗತ್ಯ ಅರ್ಹತೆಗಳ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಕಚೇರಿ ಸಮಯದಲ್ಲಿ ಹರಿಹರ ನಗರಸಭೆ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ದಾವಣಗೆರೆಯ ಜಿಲ್ಲಾಧಿಕಾರಿಗಳು ಹಾಗೂ ಆಯ್ಕೆ ಮತ್ತು ನೇರ ನೇಮಕಾತಿ ಪ್ರಾಧಿಕಾರದ ಅಧ್ಯಕ್ಷರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243


